30.09.2026 - IIಬುಧವಾರII ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಡುವುದಕ್ಕೂ ಸ್ಥಳವಿಲ್ಲ

 ಮೊದಲನೇ ವಾಚನ: ಯೋಬ 9:1-12, 14-16


ಯೋಬನು ಉತ್ತರಿಸುತ್ತಾ ಹೀಗೆಂದನು: “ಹೌದು, ನೀನು ಹೇಳುವುದು ಸರಿಯೆಂದು ನನಗೆ ಗೊತ್ತು: ನರಮಾನವ ದೇವರ ಮುಂದೆ ಸತ್ಯವಂತನಾಗಿರುವುದೆಂತು? ಯಾರಾದರೂ ಆತನೊಡನೆ ವಾದಿಸಲು ಇಷ್ಟಪಟ್ಟರೂ ಆತನ ಸಹಸ್ರ ಪ್ರಶ್ನೆಗಳೊಂದಕ್ಕೂ ಉತ್ತರಿಸಲಾಗದು. ದೇವರ ಹೃದಯ ಧೀಮಂತ, ಅವರ ಶಕ್ತಿ ಅತುಳ ಆತನನ್ನು ಪ್ರತಿಭಟಿಸಿ ಜಯಗಳಿಸಿದವನಿಲ್ಲ. ಆತ ಪರ್ವತಗಳನ್ನೇ ಸರಿಸುತ್ತಾನೆ ಅರಿಯದಂತೆ ಅವುಗಳನ್ನು ಉರುಳಿಸುತ್ತಾನೆ ಸಿಟ್ಟುಗೊಂಡಂತೆ. ಅದರ ಸ್ಥಾನದಿಂದ ಭೂಮಿಯನೆ ಕದಲಿಸುತ್ತಾನೆ ಅದರ ಸ್ತಂಭಗಳು ನಡುಗುವಂತೆ ಮಾಡುತ್ತಾನೆ. ಆತ ಆಜ್ಞೆ ಮಾಡಿದ್ದೇ ಆದರೆ ಸೂರ್ಯನು ಉದಯಿಸನು ಮುದ್ರೆ ಹಾಕಿದ್ದೇ ಆದರೆ ನಕ್ಷತ್ರವೂ ಮಿನುಗದು. ಆಕಾಶಮಂಡಲವನ್ನು ಹರಡಿದವನು ದೇವರೇ ಕಡಲಿನ ತರಂಗಗಳನ್ನು ಮೆಟ್ಟಿದವನು ಆತನೊಬ್ಬನೇ. ದಕ್ಷಿಣದ ನಕ್ಷತ್ರಗ್ರಹಗಳನೂ ಸಪ್ತರ್ಷಿಮಂಡಲವನೂ ಮೃಗಶಿರವನೂ ಕೃತ್ತಿಕೆಯನೂ ನಿರ್ಮಿಸಿದವನು ಆತನೇ. ಅಪ್ರತಿಮ ಮಹಾಕಾರ್ಯಗಳನ್ನು ಎಸಗಿರುವನು ಅಸಂಖ್ಯ ಅದ್ಭುತಕರ ಪವಾಡಗಳನ್ನು ಮಾಡಿರುವನು. ಇಗೋ, ಪಕ್ಕದಲ್ಲೇ ಆತ ದಾಟಿಹೋದರೂ ಕಾಣಿಸನು ನನ್ನ ಮುಂದುಗಡೆಯೇ ಹಾದುಹೋದರೂ ತಿಳಿಯದು. ಕಿತ್ತುಕೊಂಡು ಹೋಗುವ ಆತನಿಗೆ ಅಡ್ಡಿಮಾಡುವವರಾರು? ‘ಏನು ಮಾಡುತ್ತಿರುವೆ?’ ಎಂದು ಆತನನ್ನು ಕೇಳುವವರಾರು? ದೇವರೊಂದಿಗೆ ವಾದಿಸಲು ನಾನು ಅಶಕ್ತನು ಆತನಿಗೆ ತಕ್ಕ ಉತ್ತರ ಕೊಡಲು ನಾನೆಷ್ಟರವನು! ನಾನು ಸತ್ಯವಂತನಾಗಿದ್ದರೂ ವಾದಿಸಲಾರೆನು ನನ್ನ ನ್ಯಾಯಾಧೀಶನಲ್ಲಿ ದಯೆಯನು ಕೋರುವೆನು. ನಾನು ಕರೆದಾಗ ಓಗೊಟ್ಟಿದ್ದರೂ ನನ್ನ ವಿಜ್ಞಾಪನೆಯನ್ನು ಆಲಿಸುವನೆಂದು ನಂಬುತ್ತಿರಲಿಲ್ಲ.

ಕೀರ್ತನೆ: 88:10-11, 12-13, 14-15

ಶ್ಲೋಕ: ಓ ಪ್ರಭೂ, ನನ್ನ ಕೂಗು ನಿನ್ನ ಕಿವಿಗೆ ಬೀಳಲಿ.  

1.  ಪ್ರಭೂ, ಕೈಯೊಡ್ಡಿ ಮೊರೆಯಿಡುತ್ತಿರುವೆ ಸದಾ|
ಮೃತರು ನಿನ್ನ ಅದ್ಭುತಗಳನು ಮೆಚ್ಚುವುದುಂಟೇ?|
ಸತ್ತ ಜನರೆದ್ದು ನಿನ್ನ ಸ್ತುತಿಸುವುದುಂಟೇ?||
ಶ್ಲೋಕ

2.  ಸಾರುವುದುಂಟೆ ಸಮಾಧಿಯಲಿ ನಿನ್ನ ಕೃಪೆಯನು?|
ಅಧೋಲೋಕದಲಿ ನಿನ್ನ ಪ್ರಾಮಾಣಿಕತೆಯನು?||
ತಿಳಿವರೇ ನಿನ್ನ ಪವಾಡಗಳನು ಇರುಳ ನಿಶೆಯೊಳು?|
ನಿನ್ನ ನ್ಯಾಯನೀತಿಯನು ಮರೆವಾ ಲೋಕದೊಳು?||
ಶ್ಲೋಕ

3.  ನಾನಾದರೋ ಪ್ರಭೂ, ಮೊರೆಯಿಡುವೆ ನಿನಗೆ|
ಉದಯದಲೇ ಸೇರುವುದೆನ್ನ ಜಪ ನಿನ್ನ ಸನ್ನಿಧಿಗೆ|
ಪ್ರಭೂ, ನನ್ನ ತಳ್ಳಿಬಿಟ್ಟೆಯೇಕೆ?|
ಮುಖವನು ತಿರುಗಿಸಿಕೊಂಡೆಯೇಕೆ?||
ಶ್ಲೋಕ

ಶುಭಸಂದೇಶ: ಲೂಕ 9:57-62

ಯೇಸುಸ್ವಾಮಿ ತಮ್ಮ ಶಿಷ್ಯರೊಂದಿಗೆ ದಾರಿಯಲ್ಲಿ ಹೋಗುತ್ತಿದ್ದಾಗ ಒಬ್ಬನು ಯೇಸುವಿಗೆ, “ನೀವು ಎಲ್ಲಿಗೆ ಹೋದರೂ ನಿಮ್ಮನ್ನು ಹಿಂಬಾಲಿಸುತ್ತೇನೆ,” ಎಂದನು.  ಯೇಸು ಅವನಿಗೆ, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಡುವುದಕ್ಕೂ ಸ್ಥಳವಿಲ್ಲ,” ಎಂದರು.  ಇನ್ನೊಬ್ಬನಿಗೆ ಯೇಸು, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದಾಗ ಅವನು, “ಸ್ವಾಮೀ, ಮೊದಲು ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮುಗಿಸುವ ತನಕ ಸಮಯಕೊಡಿ,” ಎಂದನು.  ಅವನಿಗೆ ಯೇಸು, “ಸತ್ತವರೇ ತಮ್ಮ ಸತ್ತವರನ್ನು ಸಮಾಧಿಮಾಡಿಕೊಳ್ಳಲಿ; ನೀನಾದರೋ, ಹೋಗು, ದೇವರ ಸಾಮ್ರಾಜ್ಯವನ್ನು ಪ್ರಚಾರಮಾಡು,” ಎಂದು ಹೇಳಿದರು.  ಮತ್ತೊಬ್ಬನು, “ನಿಮ್ಮನ್ನು ಹಿಂಬಾಲಿಸುತ್ತೇನೆ ಪ್ರಭೂ, ಆದರೆ ಮೊದಲು ಮನೆಯವರನ್ನು ಬೀಳ್ಕೊಟ್ಟು ಬರಲು ಅಪ್ಪಣೆ ಆಗಬೇಕು,” ಎಂದನು. ಯೇಸು ಅವನನ್ನು ನೋಡಿ, “ನೇಗಿಲಿಗೆ ಕೈಹಾಕಿ ಹಿಂದಕ್ಕೆ ನೋಡುವವನು ದೇವರ ಸಾಮ್ರಾಜ್ಯಕ್ಕೆ ತಕ್ಕವನಲ್ಲ,” ಎಂದರು.

29.09.2026 - ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ

 ಮೊದಲನೇ ವಾಚನ: ದಾನಿಯೇಲನು 7:9-10, 13-14

ನಾನು ನೋಡುತ್ತಿದ್ದ ಹಾಗೆ: ಸಿಂಹಾಸನಗಳನ್ನು ಹಾಕಲಾಯಿತು. ಮಹಾವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು. ಧಗಧಗಿಸುವ ಬೆಂಕಿ ಅದರ ಚಕ್ರಗಳು.  ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದುಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿಪುಸ್ತಕಗಳನ್ನು ತೆರೆಯಲಾಯಿತು. ನಾನು ಕಂಡ ರಾತ್ರಿಯ ಕನಸಿನಲ್ಲಿ ನರಪುತ್ರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಸನ್ನಿಧಿಗೆ ತಂದರು.  ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!

ಕೀರ್ತನೆ: 138:1-2, 2-3, 4-5

ಶ್ಲೋಕ: ಹೃದಯಪೂರ್ವಕ ವಂದನೆ ಪ್ರಭೂ ನಿನಗೆ, ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ. 

ಶುಭಸಂದೇಶ: ಯೋವಾನ್ನ 1:47-51

ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.  ನತಾನಿಯೇಲನು, “ನನ್ನ ಪರಿಚಯ ನಿಮಗೆ ಹೇಗಾಯಿತು?” ಎಂದು ಕೇಳಲು ಯೇಸು, “ಫಿಲಿಪ್ಪನು ನಿನ್ನನ್ನು ಕರೆಯುವ ಮೊದಲೇ ನೀನು ಅಂಜೂರದ ಮರದಡಿ ಇದ್ದಾಗ ನಾನು ನಿನ್ನನ್ನು ಕಂಡೆ,” ಎಂದು ಉತ್ತರಕೊಟ್ಟರು.  ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.  ಆಗ ಯೇಸು, “ಅಂಜೂರದ ಮರದಡಿಯಲ್ಲಿ ನಿನ್ನನ್ನು ಕಂಡೆ ಎಂದು ನಾನು ಹೇಳಿದ ಮಾತ್ರಕ್ಕೆ ಇಷ್ಟೊಂದು ವಿಶ್ವಾಸವೆ? ಇದಕ್ಕೂ ಮಿಗಿಲಾದವುಗಳನ್ನು ನೀನು ಕಾಣುವೆ,” ಎಂದು ನುಡಿದರು.  ತಮ್ಮ ಮಾತನ್ನು ಮುಂದುವರೆಸುತ್ತಾ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ,” ಎಂದು ಹೇಳಿದರು.

28.09.2026 - IIಸೋಮವಾರII ನಿಮ್ಮೆಲ್ಲರಲ್ಲಿ ಅತ್ಯಲ್ಪನಾದವನೇ ಅತ್ಯುತ್ತಮನು

ಯೋಬನ ಗ್ರಂಥದಿಂದ ಇಂದಿನ ವಾಚನ 1: 6-22


ಒಮ್ಮೆ ಸ್ವರ್ಗನಿವಾಸಿಗಳು ಸರ್ವೇಶ್ವರಸ್ವಾಮಿಯ ಸನ್ನಿಧಿಯಲ್ಲಿ ನೆರೆದಿದ್ದರು. ಸೈತಾನನೂ ಅಲ್ಲಿಗೆ ಬಂದನು.  ಸರ್ವೇಶ್ವರ ಸೈತಾನನನ್ನು ನೋಡಿ, “ಎಲ್ಲಿಂದ ಬಂದೆ?” ಎಂದು ಕೇಳಿದರು. ಅದಕ್ಕೆ ಅವನು, “ಭೂಲೋಕದಲ್ಲಿ ಗಸ್ತು ತಿರುಗಿ ಬಂದಿದ್ದೇನೆ” ಎಂದನು.  ಆಗ ಸರ್ವೇಶ್ವರ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷ ರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು.  ಆತನಿಗೆ ಸರಿಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಗನು,” ಎಂದು ಹೇಳಿದರು. ಅದಕ್ಕೆ ಸೈತಾನನು ಹೀಗೆಂದನು: “ಲಾಭವಿಲ್ಲದೆ ಯೋಬನು ನಿಮ್ಮಲ್ಲಿ ಭಯಭಕ್ತಿ ಇಟ್ಟಿದ್ದಾನೆಯೇ?  ನೀವು ಆತನಿಗೂ ಆತನ ಎಲ್ಲ ಆಸ್ತಿಪಾಸ್ತಿಗೂ ಬೇಲಿ ಹಾಕಿ ಭದ್ರಪಡಿಸಿದ್ದೀರಲ್ಲವೇ? ಆತನು ಕೈ ಹಾಕಿದ ಕೆಲಸ ಸಫಲವಾಗುವಂತೆ ಮಾಡಿದ್ದೀರಲ್ಲವೆ? ಎಂದೇ ಆತನ ಸಿರಿ ಸಂಪತ್ತು ಈ ನಾಡಿನಲ್ಲಿ ಬೆಳೆಯುತ್ತಾ ಬಂದಿದೆ. ಆದರೆ ನೀವು ಕೈಹಾಕಿ ಆತನ ಸೊತ್ತನ್ನೆಲ್ಲಾ ಅಳಿಸಿಬಿಡಿ.  ಆಗ ಆತನು ನಿಮ್ಮನ್ನು ಮುಖಾಮುಖಿಯಾಗಿ ನಿಂದಿಸುತ್ತಾನೋ ಇಲ್ಲವೋ ಎಂದು ನೋಡುವಿರಂತೆ!” ಎಂದನು.  ಸರ್ವೇಶ್ವರ ಸೈತಾನನಿಗೆ, “ನೋಡು, ಆತನ ಆಸ್ತಿಪಾಸ್ತಿಯೆಲ್ಲ ನಿನ್ನ ಕೈವಶಕ್ಕೆ ಬಿಟ್ಟಿದ್ದೇನೆ. ಆತನ ಮೈಮೇಲೆ ಮಾತ್ರ ಕೈಹಾಕಬೇಡ”, ಎಂದು ಅಪ್ಪಣೆಕೊಟ್ಟರು.  ಕೂಡಲೆ ಸೈತಾನನು ಸರ್ವೇಶ್ವರಸ್ವಾಮಿಯ ಸನ್ನಿಧಾನದಿಂದ ಹೊರಟುಹೋದನು. ಇದಾದ ಬಳಿಕ ಯೋಬನ ಪುತ್ರಪುತ್ರಿಯರು ತಮ್ಮ ಹಿರಿಯಣ್ಣನ ಮನೆಯಲ್ಲಿ ಔತಣ ಮಾಡುತ್ತಿದ್ದರು.  ಆಗ ದೇವದೂತನೊಬ್ಬನು ಯೋಬನ ಬಳಿಗೆ ಬಂದು, “ನಿಮ್ಮ ಎತ್ತುಗಳು ಉಳುತ್ತಾ ಇದ್ದವು;  ಕತ್ತೆಗಳು ಹತ್ತಿರದಲ್ಲೆ ಮೇಯುತ್ತಾ ಇದ್ದವು.  ಅಷ್ಟರಲ್ಲಿ, ಶೆಬದವರು ಬಂದು, ಮೇಲೆ ಬಿದ್ದು, ಅವುಗಳನ್ನು ಹೊಡೆದುಕೊಂಡು ಹೋದರು.  ಕೂಲಿಯಾಳುಗಳನ್ನೂ ಕತ್ತಿಯಿಂದ ಕೊಂದುಹಾಕಿದರು. ನಾನೊಬ್ಬನೇ ತಲೆ ತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ಮುಟ್ಟಿಸಲು ಓಡಿ ಬಂದೆ," ಎಂದನು. ಅವನು ಮಾತಾಡಿ ಮುಗಿಸುವಷ್ಟರಲ್ಲೇ ಮತ್ತೊಬ್ಬನು ಬಂದು, "ದೇವರು ಆಕಾಶದಿಂದ ಬೆಂಕಿ ಸುರಿಸಿದರು.  ಅದು  ಕುರಿಗಳನ್ನೂ ಕೂಲಿಯಾಳುಗಳನ್ನೂ ಸುಟ್ಟು ಭಸ್ಮಮಾಡಿತು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ಮುಟ್ಟಿಸಲು ಓಡಿಬಂದೆ," ಎಂದನು.  ಅಷ್ಟರಲ್ಲಿ ಇನ್ನೊಬ್ಬನು ಬಂದು "ಕಸ್ಥೀಯರು ಮೂರು ಗುಂಪುಗಳಾಗಿ ಬಂದು, ಮೇಲೆ ಬಿದ್ದು, ಒಂಟೆಗಳನ್ನು ಹೊಡೆದುಕೊಂಡು ಹೋದರು.  ಅಲ್ಲದೆ ಆ ಕೂಲಿಯಾಳುಗಳನ್ನು ಕತ್ತಿಯಿಂದ ಸಂಹರಿಸಿದರು.  ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯೊಂದಿಗೆ ನಿಮ್ಮ ಬಳಿಗೆ ಓಡಿಬಂದೆ," ಎಂದನು.  ಅವನು ವರದಿ  ಮಾಡುತ್ತಿದ್ದಾಗಲೇ ಬೇರೊಬ್ಬನು ಬಂದು,  "ನಿಮ್ಮ ಪುತ್ರಪುತ್ರಿಯರು ಹಿರಿಯಣ್ಣನ  ಮನೆಯಲ್ಲಿ  ಔತಣದಲ್ಲಿದ್ದರು.  ಆಗ ತಟ್ಟನೆ ಅರಣ್ಯ ಕಡೆಯಿಂದ ಬಿರುಗಾಳಿ ಎದ್ದಿತು; ನಾಲ್ಕು ಕಡೆಯಿಂದಲೂ ಮನೆಗೆ ಬಡಿಯಿತು.  ಮನೆ ಕುಸಿದುಬಿತ್ತು.  ಯುವಕ  ಯುವತಿಯರೆಲ್ಲ ಸತ್ತುಹೋದರು.  ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ತಂದಿದ್ದೇನೆ," ಎಂದು ತಿಳಿಸಿದನು.  ಆಗ ಯೋಬನು ಎದ್ದು ನಿಂತು, ದುಃಖವನ್ನು ತಾಳಲಾರದೆ ತನ್ನ ಮೇಲಂಗಿಯನ್ನು ಹರಿದುಬಿಟ್ಟ.  ತಲೆಯನ್ನು ಬೋಳಿಸಿಕೊಂಡ.  ನೆಲದ ಮೇಲೆ ಬಿದ್ದು, ದೇವರಿಗೆ ಸಾಷ್ಟಾಂಗವೆರಗಿ:  ಬರಿಗೈಯಲಿ ಬಂದೆ ನಾನು ತಾಯ ಗರ್ಭದಿಂದ  ಬರಿಗೈಯಲಿ  ಹಿಂತಿರುಗುವೆ 
ನಾನು ಇಲ್ಲಿಂದ.
ಸರ್ವೇಶ್ವರ ಕೊಟ್ಟ 
ಸರ್ವೇಶ್ವರ
ತೆಗೆದುಕೊಂಡ.
ಆತನ ನಾಮಕ್ಕೆ 
ಸ್ತುತಿಸ್ತೋತ್ರ!
ಎಂದನು. 
ಈ ಎಲ್ಲ ವಿಪತ್ತು ಬಂದೊದಗಿದರೂ ಯೋಬನು ಪಾಪಮಾಡಲಿಲ್ಲ.  ದೇವರ ಮೇಲೆ ತಪ್ಪು ಹೊರಿಸಲಿಲ್ಲ.

ಕೀರ್ತನೆ  17: 1-3, 6-7. v. 6

ಶ್ಲೋಕ:  ಮೊರೆಯಿಡುವೆ  ದೇವಾ,  ಕಿವಿಗೊಟ್ಟು  ಆಲಿಸಯ್ಯಾ.

1.  ಲಕ್ಷ್ಯವಿಡು, ಓ ಪ್ರಭೂ, ಎನ್ನ ನ್ಯಾಯವಾದ ಮೊರೆಗೆ|
ಕಿವಿಗೊಡು, ನಿಷ್ಕಪಟ ಬಾಯಿಂದ ಬಂದ ಪ್ರಾರ್ಥನೆಗೆ||
ಶ್ಲೋಕ
 
2.  ನ್ಯಾಯ ತೀರ್ಪು ಬರಲಿ ಎನಗೆ, ನಿನ್ನಿಂದಲೇ|
ನೀತಿಗನುಸಾರ ನೋಡುವಾತ, ನೀನಲ್ಲವೇ?||
ಹೃದಯ ವೀಕ್ಷಿಸು, ಇರುಳೆಲ್ಲ ವಿಚಾರಿಸು, ಅಗ್ನಿಪರೀಕ್ಷೆ ಮಾಡಿಸು|
ನಾ ದೋಷರಹಿತ, ಮಾತಿನಲಿ ತಪ್ಪದವ, ಎಂದಾಗ ತೀರ್ಮಾನಿಸು||
ಶ್ಲೋಕ

3.  ಸದುತ್ತರ ಪಾಲಿಪೆಯೆಂದು ನಂಬಿ ಬೇಡುವೆನಯ್ಯಾ|
ಮೊರೆಯಿಡುವೆ ದೇವಾ, ಕಿವಿಗೊಟ್ಟು ಆಲಿಸಯ್ಯಾ||
ಶರಣರನು ಶತ್ರುವಿನಿಂದ ಸಂರಕ್ಷಸುವಾತ ನೀನಯ್ಯಾ|
ಭುಜಬಲವನು ಪ್ರಯೋಗಿಸಿ ಕಾಪಾಡುವಾತ ನೀನಯ್ಯಾ||
ಶ್ಲೋಕ

ಘೋಷಣೆ
(1,ಸ.ವೇ. 3: 9, ಯೊವಾನ್ನ, 6: 68)

ಅಲ್ಲೆಲೂಯ, ಅಲ್ಲೆಲೂಯ.
ಸರ್ವೇಶ್ವರಾ, ಅಪ್ಪಣೆಯಾಗಲಿ ; ತಮ್ಮ  ದಾಸ  ಕಾದಿದ್ದಾನೆ| ನಿತ್ಯ ಜೀವವನ್ನು  ಈಯುವ  ನುಡಿ  ಇರುವುದು  ತಮ್ಮಲ್ಲೇ||
ಅಲ್ಲೆಲೂಯ.

ಶುಭಸಂದೇಶ: ಲೂಕ 9:46-50


ಒಮ್ಮೆ, ತಮ್ಮಲ್ಲಿ ಅತಿ ಶ್ರೇಷ್ಟನು ಯಾರೆಂಬ ವಾದ ಶಿಷ್ಯರಲ್ಲಿ ಎದ್ದಿತು. ಅವರ ಮನಸ್ಸಿನ ಆಲೋಚನೆಗಳನ್ನು ಅರಿತ ಯೇಸು, ಒಂದಿ ಚಿಕ್ಕ ಮಗುವನ್ನು ತಂದು ತಮ್ಮ ಪಕ್ಕದಲ್ಲಿ ನಿಲ್ಲಿಸಿಕೊಂಡು, "ಯಾವನು ನನ್ನ ಹೆಸರಿನಲ್ಲಿ ಈ ಮಗುವನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನೇ ಸ್ವೀಕರಿಸುತ್ತಾನೆ; ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ. ನಿಮ್ಮೆಲ್ಲರಲ್ಲಿ ಅತ್ಯಲ್ಪನಾದವನೇ ಅತ್ಯುತ್ತಮನು," ಎಂದರು. ಆಗ ಯೊವಾನ್ನನು ಯೇಸುವಿಗೆ, "ಗುರುವೇ, ಯಾವನೋ ಒಬ್ಬನು ತಮ್ಮ ಹೆಸರಿನಲ್ಲಿ ದೆವ್ವ ಬಿಡಿಸುವುದನ್ನು ಕಂಡೆವು. ಅವನು ನಮ್ಮವನಲ್ಲದ ಕಾರಣ ಅವನನ್ನು ತಡೆದೆವು," ಎಂದನು ಅದಕ್ಕೆ ಯೇಸು, "ಅವನನ್ನು ತಡೆಯಬೇಡಿ, ನಿಮ್ಮ ವಿರೋಧಿ ಅಲ್ಲದವನು ನಿಮ್ಮ ಪರವಾಧಿ," ಎಂದು ಉತ್ತರಕೊಟ್ಟರು.

27.09.2026 - “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲೇ ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವರು


 ಮೊದಲನೇ ವಾಚನ:  ಯೆಜೆಕಿಯೇಲ 18:25-28


ಕರ್ತರು ಇಂತೆನ್ನುತ್ತಾರೆ: ನೀವು, ‘ಸರ್ವೇಶ್ವರನ ಕ್ರಮ ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೆ? ನಿಮ್ಮ ಕ್ರಮವೇ ಸರಿಯಲ್ಲವಷ್ಟೆ.  ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮದಿಂದಲೇ ಸಾಯಬೇಕಾಯಿತು.  ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನ್ಯಾಯನೀತಿಗಳನ್ನು ನಡೆಸಿದರೆ, ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.  ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯನು, ಖಂಡಿತ ಜೀವಿಸುವನು."

ಕೀರ್ತನೆ: 25:4-5, 6-7, 8-9

ಶ್ಲೋಕ: ನೆನಸಿಕೋ ಪ್ರಭೂ,  ನಿನ್ನ ನಿರಂತರ ಕರುಣೆಯನು 

1.  ನಿನ್ನ ಮಾರ್ಗವನು ಪ್ರಭೂ, ನನಗೆ ತೋರಿಸು|
ನೀನೊಪ್ಪುವ ಪಥದಲಿ ನಾ ನಡೆಯ ಕಲಿಸು|
ಸನ್ಮಾರ್ಗದಲಿ ಮುನ್ನಡೆಸೆನ್ನ ದೇವಾ, ಮುಕ್ತಿದಾತ||
ಶ್ಲೋಕ

2.  ನೆನೆಸಿಕೋ ಪ್ರಭೂ, ನಿನ್ನ ನಿರಂತರ ಕರುಣೆಯನು|
ಆದಿಯಿಂದ ನೀ ತೋರಿದಚಲ ಪ್ರೀತಿಯನು||
ಯೌವನದೆನ್ನ ಪಾಪ ಪವೃತ್ತಿಗಳ ಮನದಲ್ಲಿಟ್ಟುಕೊಳ್ಳಬೇಡ|
ನಿನ್ನೊಲುಮೆ ನಲ್ಮೆಗಳ ನಿಮಿತ್ತ ಪ್ರಭೂ, ನನ್ನ ನೆನೆಯದಿರಬೇಡ||
ಶ್ಲೋಕ

3.  ಸತ್ಯಸ್ವರೂಪನು, ದಯಾವಂತನು ಪ್ರಭು|
ದಾರಿ ತಪ್ಪಿದವರಿಗೆ ಬೋಧಕನು ವಿಭು||
ದೀನರನು ನಡೆಸುವನು ತನ್ನ ವಿಧಿಗನುಸಾರ|
ದಲಿತರಿಗೆ ಕಲಿಸುವನು ತನ್ನ ಧರ್ಮಾಚಾರ||
ಶ್ಲೋಕ

ಎರಡನೇ ವಾಚನ: ಫಿಲಿಪ್ಪಿಯರಿಗೆ 2:1-11


ಸಹೋದರರೇ, ಕ್ರಿಸ್ತ ಯೇಸುವಿನಲ್ಲಿ ನಿಮಗೆ ಉತ್ಸಾಹ, ಉತ್ತೇಜನ, ಪ್ರೀತಿ, ಪ್ರೇರಣೆ, ಪವಿತ್ರಾತ್ಮ ಅವರ ಅನ್ಯೋನ್ಯತೆ, ದೀನದಯಾಳತೆ ಇರುವುದಾದರೆ ಐಕಮತ್ಯದಿಂದ ಬಾಳಿರಿ.  ಒಂದೇ ಮನಸ್ಸು, ಒಂದೇ ಪ್ರೀತಿ ಇರಲಿ. ನಿಮ್ಮ ಗುರಿ ಧ್ಯೇಯಗಳು ಒಂದೇ ಆಗಿರಲಿ. ಆಗ ನನ್ನ ಸಂತೋಷವು ಸಂಪೂರ್ಣಗೊಳ್ಳುವುದು. ಸ್ವಾರ್ಥಸಾಧನೆಗಾಗಲಿ, ಡಂಭಾಚಾರಕ್ಕಾಗಲಿ ಏನನ್ನೂ ಮಾಡಬೇಡಿ. ಪರಸ್ಪರ ನಮ್ರತೆಯಿಂದ ನಡೆದುಕೊಳ್ಳಿ; ಇತರರು ನಿಮಗಿಂತಲೂ ಶ್ರೇಷ್ಠರೆಂದು ಪರಿಗಣಿಸಿರಿ. ಸ್ವಹಿತವನ್ನೇ ಗಮನಿಸದೆ ಪರರ ಹಿತವನ್ನೂ ಬಯಸಿರಿ. ಕ್ರಿಸ್ತಯೇಸುವಿನಲ್ಲಿರುವ ಮನೋಭಾವ ನಿಮ್ಮಲ್ಲೂ ನೆಲಸಿರಲಿ: ದೇವಸ್ವರೂಪಿ ತಾನಾಗಿದ್ದರೂ ನಿರುತ ದೇವರಿಗೆ ಸಮನಾದ ಆ ಸಿರಿ  ಪದವಿಯನಾತ ಹಿಡಿದಿಟ್ಟುಕೊಳ್ಳಲಿಲ್ಲ ಬಿಡಲೊಲ್ಲೆನೆನುತ. ತನ್ನನ್ನೇ ಬರಿದುಮಾಡಿಕೊಂಡು ದಾಸನ ರೂಪವನು ಧರಿಸಿಕೊಂಡು ಮನುಜನಾಕಾರದಲಿ ಕಾಣಿಸಿಕೊಂಡು ನರಮಾನವರಿಗೆ ಸರಿಸಮನಾದ. ತನ್ನನ್ನೇ ಆತ ತಗ್ಗಿಸಿಕೊಂಡು ವಿಧೇಯನಾಗಿ ನಡೆದುಕೊಂಡು ಮರಣಪರಿಯಂತ ಹೌದೌದು, ಶಿಲುಬೆಯ ಮರಣಪರಿಯಂತ ವಿಧೇಯನಾದ. ಎಂತಲೇ ಪರಮೋನ್ನತ ಸ್ಥಾನಕ್ಕೇರಿಸಿದನಾತನನು ಇತ್ತನು ಹೆಸರುಗಳೊಳುತ್ತಮ ಹೆಸರನು ದೇವಪರಮನು. ಯೇಸುವಿನ ಹೆಸರಿಗೆಂದೇ ಮೊಣಕಾಲೂರಿ ಮಣಿವರು ಸ್ವರ್ಗವಾಸಿಗಳು, ಭೂನಿವಾಸಿಗಳು, ಪಾತಾಳ ಜೀವರಾಶಿಗಳು. ‘ಕ್ರಿಸ್ತಯೇಸುವೇ ಪ್ರಭು' ಎಂದೆಲ್ಲರಿಗೆ ಅರಿಕೆ ಮಾಡುವರು ಪಿತದೇವನ ಮಹಿಮೆಯನು ಈ ಪರಿ ಹೊಗಳಿ ಸಾರುವರವರು.

ಘೋಷಣೆ
(ಯೊವಾನ್ನ 8: 12)

ಅಲ್ಲೆಲೂಯ, ಅಲ್ಲೆಲೂಯ.
ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ | ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ ||
ಅಲ್ಲೆಲೂಯ.

ಶುಭಸಂದೇಶ: ಮತ್ತಾಯ 21:28-32


ಯೇಸುಸ್ವಾಮಿ ಮುಖ್ಯ ಯಾಜಕರಿಗೂ ಪ್ರಜಾಪ್ರಮುಖರಿಗೂ  “ಈ ಬಗ್ಗೆ ನಿಮಗೇನು ಅನಿಸುತ್ತದೆ? ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರು. ಒಮ್ಮೆ ಆತ ಮೊದಲನೆಯ ಮಗನ ಹತ್ತಿರ ಬಂದು, ‘ಮಗನೇ, ಈ ಹೊತ್ತು ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡು’ ಎಂದ.  ಅದಕ್ಕೆ ಅವನು, ‘ನಾನು ಹೋಗುವುದಿಲ್ಲ’ ಎಂದು ಉತ್ತರವಿತ್ತ. ಆದರೂ ಅನಂತರ ಪಶ್ಚಾತ್ತಾಪಪಟ್ಟು ಅವನು ತೋಟಕ್ಕೆ ಹೋದ.  ತಂದೆ ಎರಡನೆಯ ಮಗನ ಹತ್ತಿರ ಹೋಗಿ ಅಂತೆಯೇ ತೋಟಕ್ಕೆ ಹೋಗಲು ಹೇಳಿದ. ಅವನು, ‘ಇಗೋ, ಹೋಗುತ್ತೇನಪ್ಪಾ’, ಎಂದು ಹೇಳಿದ. ಆದರೆ ಹೋಗಲೇ ಇಲ್ಲ.  ಇವರಿಬ್ಬರಲ್ಲಿ ತಂದೆಯ ಇಷ್ಟದಂತೆ ನಡೆದವನು ಯಾರು?” ಎಂದು ಯೇಸು ಕೇಳಿದರು. “ಮೊದಲನೆಯ ಮಗನೇ,” ಎಂದು ಉತ್ತರಿಸಿದರು ಅವರು. ಆಗ ಯೇಸುಸ್ವಾಮಿ, “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲೇ ದೇವರಸಾಮ್ರಾಜ್ಯವನ್ನು ಪ್ರವೇಶಿಸುವರು ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.  ಸ್ನಾನಿಕ ಯೊವಾನ್ನನು ಧರ್ಮಮಾರ್ಗವನ್ನು ತೋರಿಸಲು ಬಂದನು. ನೀವು ಆತನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಆತನನ್ನು ನಂಬಿದರು. ಇದನ್ನು ಕಂಡ ಮೇಲೂ ನೀವು ಪಶ್ಚಾತ್ತಾಪಪಡಲಿಲ್ಲ, ಯೊವಾನ್ನನನ್ನು ನಂಬಲೂ ಇಲ್ಲ.

26.09.2026 IIಶನಿವಾರII ನರಪುತ್ರನು ಜನರ ವಶಕ್ಕೆ ಒಪ್ಪಿಸಲ್ಪಡಲಿದ್ದಾನೆ

ಮೊದಲನೇ ವಾಚನ:  ಉಪದೇಶ 11:9--12:8

ಯುವಕನೇ, ಯೌವನದಲ್ಲಿ ಆನಂದಿಸು. ಯೌವನ ದಿನಗಳಲ್ಲಿ ಹೃತ್ಪೂರ್ವಕವಾಗಿ ಸಂತೋಷಿಸು. ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೊ. ಆದರೆ ಈ ಎಲ್ಲ ವಿಷಯಗಳಲ್ಲಿ ದೇವರು ನಿನ್ನನ್ನು ನ್ಯಾಯ ವಿಚಾರಣೆಗೆ ಗುರಿಮಾಡುವರೆಂಬುದನ್ನು ಮನದಲ್ಲಿಡು. ನಿನ್ನ ಹೃದಯದಿಂದ ವ್ಯಥೆಯನ್ನೂ ನಿನ್ನ ದೇಹದಿಂದ ಯಾತನೆಯನ್ನೂ ದೂರಮಾಡು. ಯೌವನವೂ ಪ್ರಾಯವೂ ಬೇಗ ಮಾಯವಾಗುವುವು. ಆದುದರಿಂದ ಯೌವನದಲ್ಲಿ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸಿಕೊ. ಕಷ್ಟಕರವಾದ ದಿನಗಳು ಬರುವುದಕ್ಕೆ ಮುನ್ನ, ಜೀವನ ಬೇಸರವಾಗಿದೆ ಎಂದು ನೀನು ಹೇಳುವುದಕ್ಕೆ ಮುಂಚೆ ಆತನನ್ನು ಸ್ಮರಿಸು. ಆ ಕಷ್ಟಕರವಾದ ದಿನಗಳಲ್ಲಿ ಸೂರ್ಯಚಂದ್ರನಕ್ಷತ್ರಗಳೂ ನಿನಗೆ ಮೊಬ್ಬಾಗುವುವು. ಮಳೆಯಾದ ಮೇಲೂ ಮೋಡಗಳು ಮತ್ತೆ ಬರುವುವು; ಬಲಿಷ್ಠವಾಗಿದ್ದ ನಿನ್ನ ಕಾಲುಗಳು ಬಗ್ಗುವುವು; ಹಲ್ಲುಗಳು ಉದುರಿ ಅಗಿಯುವ ಕೆಲಸ ನಿಲ್ಲುವುದು; ಕಿಟಕಿಗಳಂಥ ಕಣ್ಣುಗಳು ಮಂಕಾಗುವುವು. ಕಿವಿಗಳು ಮಂದವಾಗಿ ಹಾದಿಬೀದಿಗಳ ಶಬ್ದವು ಕೇಳಿಸವು. ಬೀಸುವ ಶಬ್ದವು ತಗ್ಗಿ ಹಕ್ಕಿಯ ಶಬ್ದಗಳಷ್ಟು ಕಿರಿಯದಾಗುವುದು; ಬೀಸುವವರ ಹಾಡೆಲ್ಲಾ ಕುಗ್ಗಿ ಹೋಗುವುದು; ದಾರಿಯಲ್ಲಿ ನಡೆವುದು ಅಪಾಯಕರವಾಗಿರುವುದು; ಹೂ ಬಿಟ್ಟ ಬಾದಾಮಿ ಮರದಂತೆ ತಲೆಗೂದಲು ನರೆತುಬಿಡುವುದು, ಮಿಡತೆಯು ಕೂಡ ಭಾರವಾಗುವುದು; ಆಸೆ ಕುಂದಿಹೋಗುವುದು. ನಿನ್ನ ನಿತ್ಯಗೃಹಕ್ಕೆ ತೆರಳಿರುವೆ, ಗೋಳಾಟದವರು ಬೀದಿಯಲ್ಲಿ ಕಾಣಿಸಿಕೊಳ್ಳುವರು, ಬೆಳ್ಳಿಯ ಸರ ಕಿತ್ತುಹೋಗುವುದು, ಚಿನ್ನದಬಟ್ಟಲು ಜಜ್ಜಿ ಹೋಗುವುದು; ಮಡಕೆ ಬುಗ್ಗೆಯ ಹತ್ತಿರವೆ ಒಡೆಯುವುದು, ಬಾವಿಯ ರಾಟೆ ಮುರಿಯುವುದು. ಮಣ್ಣಿನ ದೇಹ ತನ್ನ ಭೂಮಿಗೆ ಸೇರಿ ಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು, (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ). “ವ್ಯರ್ಥವೇ ವ್ಯರ್ಥ ! ಸಮಸ್ತವೂ ವ್ಯರ್ಥ!!” ಎನ್ನುತ್ತಾನೆ ಉಪದೇಶಕ.

ಕೀರ್ತನೆ: 90:3-4, 5-6, 12-13, 14, 17

ಶ್ಲೋಕ: ಪ್ರಭೂ, ತಲತಲಾಂತರಕ್ಕೂ ಶ್ರೀನಿವಾಸ ನಿನೆಮಗೆ 

1.  ಇಳೆಯ ಮಾನವರನು ನೀ ಮಣ್ಣುಪಾಲಾಗಿಸುತಿಹೆ| 'ನರಪುತ್ರರೇ, ಮರಳಿ ಮಣ್ಣಿಗೆ ಸೇರಿರಿ' ಎನ್ನುತಿಹೆ||
ನಿನ್ನ ದೃಷ್ಟಿಯಲ್ಲಿ ಪ್ರಭೂ, ಸಹಸ್ರ ವರುಷ|
ಇರುಳಿನೊಂದು ಜಾವ, ಗತಿಸಿಹೋದ ಒಂದು ದಿವಸ||
ಶ್ಲೋಕ

2.  ಮನುಜರು ನೀ ಹರಿದೋಡಿಸುವ ಹೊಯಿಲು|
ಇರುಳಿನ ಕನಸು, ಹಗಲಿನ ಗರಿ ಹುಲ್ಲು|| ಚಿಗುರಿ ಹೂ ಬಿಡುವುದು ಬೆಳಗಿನಲಿ|
ಸೊರಗಿ ತರಗಾಗುವುದು ಬೈಗಿನಲಿ||
ಶ್ಲೋಕ

3.  ಜೀವನಾವಧಿಯನು ಲೆಕ್ಕಿಸುವುದನು ನಮಗೆ ಕಲಿಸು|
ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು||
ಪ್ರಭೂ, ತಿರುಗಿ ಬಾ ಕೋಪವೆಷ್ಟರ ತನಕ|
ನಿನ್ನ ಸೇವಕರ ಮೇಲಿರಲಿ ಮರುಕ||
ಶ್ಲೋಕ

4.  ಉದಯದಲೇ ತೋಯಿಸೆಮ್ಮನು ನಿನ್ನ ಕೃಪೆಯಿಂದ|
ಹರ್ಷಿಸಿ ಆನಂದಿಸುವೆವು ಆಗ ದಿನದಾದ್ಯಂತ||
ಸ್ವಾಮಿದೇವರ ಆಶೀರ್ವಾದ ನಮ್ಮ ಮೇಲಿರಲಿ|
ನಾವು ಕೈಗೊಳ್ಳುವ ಕಾರ್ಯಗಳು ಸಫಲವಾಗಲಿ||
ಶ್ಲೋಕ

ಘೋಷಣೆ
(ಯೊವಾನ್ನ 17: 17)
ಅಲ್ಲೆಲೂಯ, ಅಲ್ಲೆಲೂಯ.
ಇವರನ್ನು  ಸತ್ಯಸಂಧರನ್ನಾಗಿಸಿ  ನಿಮ್ಮ  ಸೇವೆಗೆ  ಮೀಸಲಾಗಿಡಿ; | ನಿಮ್ಮ  ಮಾತೇ  ಸತ್ಯ ||
ಅಲ್ಲೆಲೂಯ.

ಶುಭಸಂದೇಶ: ಲೂಕ 9:43-45


ಯೇಸುಸ್ವಾಮಿ ಮಾಡಿದ ಸಕಲ ಮಹತ್ಕಾರ್ಯಗಳನ್ನು ಕುರಿತು ಜನರೆಲ್ಲರೂ ಸೋಜಿಗಪಡುತ್ತಿರುವಲ್ಲಿ, ಶಿಷ್ಯರಿಗೆ,  “ಈ ನನ್ನ ಮಾತು ನಿಮ್ಮ ಕಿವಿಗೆ ಇಳಿಯಲಿ. ಅದೇನೆಂದರೆ: “ನರಪುತ್ರನು ಜನರ ವಶಕ್ಕೆ ಒಪ್ಪಿಸಲ್ಪಡಲಿದ್ದಾನೆ,” ಎಂದರು.  ಯೇಸು ಹೇಳಿದ ಈ ಮಾತನ್ನು ಶಿಷ್ಯರು ಗ್ರಹಿಸಿಕೊಳ್ಳಲಿಲ್ಲ; ಒಗಟಿನ ಹಾಗೆ ಇದ್ದುದರಿಂದ ಅರ್ಥಮಾಡಿಕೊಳ್ಳಲಿಲ್ಲ. ಅದನ್ನು ಕುರಿತು ಯೇಸುವನ್ನು ಕೇಳುವುದಕ್ಕೂ ಅವರು ಅಂಜಿದರು.


25.09.2026 -IIಶುಕ್ರವಾರII ದೇವರಿಂದ ಅಭಿಷಿಕ್ತರಾದ ಲೋಕೋದ್ಧಾರಕ ತಾವೇ


 ಮೊದಲನೇ ವಾಚನ: ಉಪದೇಶ 3:1-11

ಪ್ರತಿಯೊಂದು ಕಾಲಕ್ಕೂ ನಿಗದಿಯಾದ ಕಾಲವಿದೆ. ಜಗತ್ತಿನಲ್ಲಿ ನಡೆಯುವ ಒಂದೊಂದು ಕೆಲಸಕ್ಕೂ ಸೂಕ್ತ ಸಮಯವಿದೆ: ಹುಟ್ಟುವ ಸಮಯ, ಸಾಯುವ ಸಮಯ ನೆಡುವ ಸಮಯ, ನೆಟ್ಟದ್ದನ್ನು ಕೀಳುವ ಸಮಯ. ಕೊಲ್ಲುವ ಸಮಯ, ಗುಣಪಡಿಸುವ ಸಮಯ ಕೆಡವಿಬಿಡುವ ಸಮಯ, ಕಟ್ಟಿ ಎಬ್ಬಿಸುವ ಸಮಯ. ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ. ಕಲ್ಲುಗಳನ್ನು ಬಿಸಾಡುವ ಸಮಯ, ಕಲ್ಲುಗಳನ್ನು ಕೂಡಿಸಿಡುವ ಸಮಯ ಆಲಿಂಗನ ಮಾಡುವ ಸಮಯ, ಆಲಿಂಗನ ಮಾಡದ ಸಮಯ. ಗಳಿಸುವ ಸಮಯ, ಕಳೆದುಕೊಳ್ಳುವ ಸಮಯ ಕಾಪಾಡುವ ಸಮಯ, ಬಿಸಾಡುವ ಸಮಯ. ಹರಿಯುವ ಸಮಯ, ಹೊಲಿಯುವ ಸಮಯ ಸುಮ್ಮನಿರುವ ಸಮಯ, ಮಾತಾಡುವ ಸಮಯ. ಪ್ರೀತಿಸುವ ಸಮಯ, ದ್ವೇಷಿಸುವ ಸಮಯ ಯುದ್ಧಮಾಡುವ ಸಮಯ, ಸಮಾಧಾನಮಾಡುವ ಸಮಯ. ಹೀಗೆ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು. ಕಷ್ಟಪಟ್ಟು ಮಾಡುವ ದುಡಿಮೆಯಿಂದ ಒಬ್ಬನಿಗೆ ಸಿಗುವ ಲಾಭವಾದರೂ ಏನು?  ನರಮಾನವರ ಕರ್ತವ್ಯವೆಂದು ದೇವರು ವಿಧಿಸಿರುವ ದುಡಿಮೆಯನ್ನು ನಾನು ಗಮನಿಸಿದ್ದೇನೆ.  ಒಂದೊಂದು ವಸ್ತುವನ್ನೂ ಸಮಯಕ್ಕೆ ತಕ್ಕಂತೆ ಸುಂದರವಾಗಿ ನಿರ್ಮಿಸಿದ್ದಾರೆ ದೇವರು. ಇದಲ್ಲದೆ, ಮನುಷ್ಯನ ಹೃದಯದಲ್ಲಿ ಅಮರತ್ವದ ಪ್ರತಿಯನ್ನು ಮೂಡಿಸಿದ್ದಾರೆ. 

ಕೀರ್ತನೆ: 144:1-2, 3-4

ಶ್ಲೋಕ: ಸ್ತುತಿಸ್ತೋತ್ರ ಪ್ರಭುವಿಗೆ, ನನ್ನ ಆಶ್ರಯ ದುರ್ಗಕೆ 

1.  ಸ್ತುತಿಸ್ತೋತ್ರ ಪ್ರಭುವಿಗೆ, ನನ್ನ ಆಶ್ರಯದುರ್ಗಕೆ|
ಕಲಿಸಿಹನು ಕದನ ಕೈಗೆ, ಕಾಳಗ ನನ್ನ ಬೆರಳಿಗೆ||
ಆತನೇ ನನಗೆ ಬಂಡೆ, ಕೋಟೆ, ದುರ್ಗ, ಉದ್ಧಾರಕ|
ನನಗೆ ರಕ್ಷಾಕವಚ, ಆಶ್ರಯ, ಶತ್ರುವಿಧ್ವಂಸಕ||
ಶ್ಲೋಕ

2.  ಹೇ ಪ್ರಭೂ, ಮನುಜನು ಎಷ್ಟರವನು ನೀನವನನು ಲಕ್ಷಿಸಲು?|
ನರಮಾನವನು ಏತರದವನು ನೀನವನನು ಪರಾಮರಿಸಲು?||
ಮಾನವನು ಕೇವಲ ಉಸಿರಿಗೆ ಸಮಾನ|
ಮರೆಯಾಗುವ ನೆರಳು ಅವನ ಜೀವನ||
ಶ್ಲೋಕ


ಘೋಷಣೆ
(ಯೊವಾನ್ನ 15: 15)
ಅಲ್ಲೆಲೂಯ, ಅಲ್ಲೆಲೂಯ.
ನಾನು  ಪಿತನಿಂದ  ಕೇಳಿಸಿಕೊಂಡದ್ದನ್ನೆಲ್ಲಾ  ನಿಮಗೆ  ತಿಳಿಸಿದ್ದೇನೆ| ಈ  ಕಾರಣ  ನಿಮ್ಮನ್ನು  ಗೆಳೆಯರೆಂದು  ಕರೆದಿದ್ದೇನೆ||
ಅಲ್ಲೆಲೂಯ.

ಶುಭಸಂದೇಶ: ಲೂಕ 9:18-22

ಒಮ್ಮೆ ಯೇಸುಸ್ವಾಮಿ ಏಕಾಂಗಿಯಾಗಿ ಪ್ರಾರ್ಥನೆ ಮಾಡುತ್ತಿದ್ದಾಗ ಶಿಷ್ಯರು ಸಮೀಪದಲ್ಲೇ ಇದ್ದರು. “ಜನಸಾಮಾನ್ಯರು ನನ್ನನ್ನು ಯಾರೆನ್ನುತ್ತಾರೆ?” ಎಂದು ಯೇಸು ಅವರನ್ನು ಪ್ರಶ್ನಿಸಿದರು.  ಅದಕ್ಕೆ ಅವರು, “ಹಲವರು ತಮ್ಮನ್ನು ‘ಸ್ನಾನಿಕ ಯೊವಾನ್ನ’ ಎನ್ನುತ್ತಾರೆ; ಕೆಲವರು ‘ಎಲೀಯನು’ ಎನ್ನುತ್ತಾರೆ; ಮತ್ತೆ ಕೆಲವರು ‘ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ಮರಳಿ ಜೀವಂತನಾಗಿದ್ದಾನೆ’ ಎನ್ನುತ್ತಾರೆ,” ಎಂದು ಉತ್ತರವಿತ್ತರು. ಆಗ ಯೇಸು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಪುನಃ ಪ್ರಶ್ನಿಸಿದರು. ಅದಕ್ಕೆ ಪೇತ್ರನು, “ದೇವರಿಂದ ಅಭಿಷಿಕ್ತರಾದ ಲೋಕೋದ್ಧಾರಕ ತಾವೇ" ಎಂದು ಉತ್ತರ ಕೊಟ್ಟನು.  ಈ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಯೇಸು ಶಿಷ್ಯರನ್ನು ಆಜ್ಞಾಪೂರ್ವಕವಾಗಿ ಎಚ್ಚರಿಸಿದರು. ಇದಲ್ಲದೆ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಮುಖ್ಯಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು. ಆದರೆ ಮೂರನೇ ದಿನ ಆತನು ಪುನರುತ್ಥಾನ ಹೊಂದುವನು," ಎಂದು ಅವರಿಗೆ ತಿಳಿಸಿದರು.

24.09.2026 - IIಗುರುವಾರII ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ಮರಳಿ ಜೀವಂತನಾಗಿದ್ದಾನೆ

 

ಮೊದಲನೇ ವಾಚನ: ಉಪದೇಶಕ 1:2-11


ಉಪದೇಶಕನು ಹೇಳುವುದನ್ನು ಕೇಳಿ: ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥವೇ ವ್ಯರ್ಥ, ಎಲ್ಲವೂ ವ್ಯರ್ಥ! ಈ ಲೋಕದಲ್ಲಿ ಮನುಷ್ಯನು ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ದೊರಕುವ ಲಾಭವಾದರೂ ಏನು? ಒಂದು ಸಂತತಿ ಗತಿಸುತ್ತದೆ, ಮತ್ತೊಂದು ಸಂತತಿ ಬರುತ್ತದೆ, ಭೂಮಿಯಾದರೋ ಶಾಶ್ವತವಾಗಿ ನಿಲ್ಲುತ್ತದೆ. ಸೂರ್ಯನು ಮೂಡುತ್ತಾನೆ, ಸೂರ್ಯನು ಮುಳುಗುತ್ತಾನೆ, ತಾನು ಹೊರಟ ಸ್ಥಳಕ್ಕೆ ಮರಳಿ ಓಡುತ್ತಾನೆ. ಗಾಳಿ ದಕ್ಷಿಣಕ್ಕೆ ಬೀಸುತ್ತದೆ, ಉತ್ತರದ ಕಡೆಗೆ ತಿರುಗುತ್ತದೆ, ಸುತ್ತುತ್ತಾ ಸುತ್ತುತ್ತಾ ಹೋಗಿ ಹಿಂತಿರುಗಿ ಬರುತ್ತದೆ. ನದಿಗಳು ಹರಿದು ಸಮುದ್ರವನ್ನು ಸೇರುತ್ತವೆ, ಆದರೂ ಸಮುದ್ರವು ತುಂಬುವುದಿಲ್ಲ. ಅವು ಎಲ್ಲಿಂದ ಹರಿದು ಬರುತ್ತವೋ ಅಲ್ಲಿಗೆ ಹಿಂತಿರುಗಿ ಹೋಗುತ್ತವೆ. ಮನುಷ್ಯನಿಂದ ವಿವರಿಸಲಾಗದಷ್ಟು ಎಲ್ಲವೂ ನೀರಸ. ಎಷ್ಟು ನೋಡಿದರೂ ಕಣ್ಣಿಗೆ ತೃಪ್ತಿಯಿಲ್ಲ. ಎಷ್ಟು ಕೇಳಿದರೂ ಕಿವಿಗೆ ದಣಿವಿಲ್ಲ. ಇದ್ದದ್ದೇ ಇರುತ್ತದೆ, ನಡೆದದ್ದೇ ನಡೆಯುತ್ತದೆ. ಲೋಕದಲ್ಲಿ ಹೊಸದೇನೂ ಇಲ್ಲ.  ಇಗೋ, ಹೊಸದು ಎನಿಸುಕೊಳ್ಳುವ ವಸ್ತು ಇದ್ದರೂ ಅದು ನಮಗಿಂತ ಮುಂಚೆಯೇ ಪುರಾತನ ಕಾಲದಲ್ಲೇ ಇದ್ದುದು. ಹಿಂದಿನ ಕಾಲದವರ ಜ್ಞಾಪಕವು ಇಂದಿನವರಿಗಿಲ್ಲ. ಮುಂದಿನ ಕಾಲದವರ ಜ್ಞಾಪಕವು ಅವರಿಗಿಂತ ಮುಂದೆ ಬರುವವರಿಗೆ ಇರುವುದಿಲ್ಲ.

ಕೀರ್ತನೆ: 90:3-4, 5-6, 12-13, 14, 17

ಶ್ಲೋಕ: ಪ್ರಭೂ, ತಲತಲಾಂತರಕೂ ಶ್ರೀನಿವಾಸ ನೀನೆಮಗೆ 

1.  ಇಳೆಯ ಮಾನವರನು ನೀ ಮಣ್ಣು ಪಾಲಾಗಿಸುತಿಹೆ  
'ನರಪುತ್ರರೇ, ಮರಳಿ ಮಣ್ಣಿಗೆ ಸೇರಿರಿ' ಎನ್ನುತಿಹೆ||
ನಿನ್ನ ದೃಷ್ಟಿಯಲ್ಲಿ ಪ್ರಭೂ, ಸಹಸ್ರ ವರುಷ|
ಇರುಳಿನೊಂದು ಜಾವ, ಗತಿಸಿಹೋದ ಒಂದು ದಿವಸ||
ಶ್ಲೋಕ

2.  ಮನುಜರು ನೀ ಹರಿದೋಡಿಸುವ ಹೊಯಿಲು|
ಇರುಳಿನ ಕನಸು, ಹಗಲಿನ ಗರಿಹುಲ್ಲು||
ಚಿಗುರಿ ಹೊಬಿಡುವುದದು ಬೆಳಗಿನಲಿ|
ಸೊರಗಿ ತರಗಾಗುವುದು ಬೈಗಿನಲಿ||
ಶ್ಲೋಕ
3.  ಜೀವನಾವಧಿಯನು ಲೆಕ್ಕಿಸುವುದನು ನಮಗೆ ಕಲಿಸು|
ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು||
ಪ್ರಭೂ, ತಿರುಗಿ ಬಾ, ಕೋಪವೆಷ್ಟರ ತನಕ?|
ನಿನ್ನ ಸೇವಕರ ಮೇಲಿರಲಿ ಮರುಕ||
ಶ್ಲೋಕ
4.  ಉದಯದಲೇ ತೋಯಿಸೆಮ್ಮನು ನಿನ್ನ ಕೃಪೆಯಿಂದ|
ಹರ್ಷಿಸಿ ಆನಂದಿಸುವೆವು ಆಗ ದಿನದಾದ್ಯಂತ||
ಸ್ವಾಮಿದೇವರ ಆಶೀರ್ವಾದ ನಮ್ಮ ಮೇಲಿರಲಿ|
ನಾವು ಕೈಗೊಳ್ಳುವ ಕಾರ್ಯಗಳು ಸಫಲವಾಗಲಿ||
ಶ್ಲೋಕ

ಘೋಷಣೆ
(ಯೊವಾನ್ನ 14: 23)
ಅಲ್ಲೆಲೂಯ, ಅಲ್ಲೆಲೂಯ.
ನನ್ನನ್ನು  ಪ್ರೀತಿಸುವವನು  ನನ್ನ  ಮಾತನ್ನು  ಕೈಗೊಂಡು  ನಡೆಯುವನು| ಅವನನ್ನು  ನನ್ನ  ಪಿತನೂ  ಪ್ರೀತಿಸುವರು,  ಮತ್ತು  ನಾವಿಬ್ಬರೂ  ಅವನ  ಬಳಿ  ಬಂದು  ಅವನಲ್ಲಿ  ನೆಲಸುವೆವು ||

ಶುಭಸಂದೇಶ: ಲೂಕ 9:7-9

ನಡೆಯುತ್ತಿದ್ದ ಎಲ್ಲ ಸಂಗತಿಗಳು ಸಾಮಂತರಾಜ ಹೆರೋದನ ಕಿವಿಗೆ ಬಿದ್ದುವು. ಅವನ ಮನಸ್ಸು ಕಳವಳಗೊಂಡಿತ್ತು. ಏಕೆಂದರೆ, ‘ಯೊವಾನ್ನನು ಮರಳಿ ಜೀವಂತನಾಗಿ ಎದ್ದಿದ್ದಾನೆ’ ಎಂದು ಕೆಲವರೂ ‘ಎಲೀಯನು ಪುನಃ ಕಾಣಿಸಿಕೊಂಡಿದ್ದಾನೆ’, ಎಂದು ಇನ್ನು ಕೆಲವರೂ ‘ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ಮರಳಿ ಜೀವಂತನಾಗಿದ್ದಾನೆ,’ ಎಂದು ಮತ್ತೆ ಕೆಲವರೂ ಹೇಳುತ್ತಿದ್ದರು. ಹೆರೋದನಾದರೋ, ‘ಯೊವಾನ್ನನೇ! ಅವನನ್ನು ನಾನೇ ಶಿರಚ್ಛೇದನ ಮಾಡಿಸಿದೆನಲ್ಲಾ; ಮತ್ತೆ ಇವನಾರು? ಇವನ ಬಗ್ಗೆ ಇಂಥಾ ವಿಷಯಗಳನ್ನೆಲ್ಲ ಕೇಳುತ್ತಾ ಇರುವೆನಲ್ಲಾ!’ ಎಂದುಕೊಂಡು, ಯೇಸುವನ್ನು ನೋಡಲು ಅವಕಾಶ ಹುಡುಕುತ್ತಿದ್ದನು. 

23.09.2026 - IIಬುಧವಾರII ಪ್ರೇಷಿತರು ಹೊರಟು ಹಳ್ಳಿಹಳ್ಳಿಗೂ ಹೋಗಿ ಎಲ್ಲ ಕಡೆ ಶುಭಸಂದೇಶವನ್ನು ಬೋಧಿಸಿದರು



 ಮೊದಲನೇ ವಾಚನ: ಜ್ಞಾನೋಕ್ತಿಗಳು 30:5-9


ದೇವರ ಒಂದೊಂದು ಮಾತೂ ಪರಿಶುದ್ಧ; ಆತನೇ ಶರಣರ ಖೇಡ್ಯ; ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಇಲ್ಲವಾದರೆ ಆತ ನಿನ್ನನ್ನು ಖಂಡಿಸಿಯಾನು, ನೀನು ಸುಳ್ಳುಗಾರನಾಗಿ ತೋರಿ ಬಂದೀಯೆ! ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ: ನಿರಾಕರಿಸಬೇಡ, ನಾನು ಸಾಯುವುದರೊಳಗೆ ಅವುಗಳನ್ನು ಅನುಗ್ರಹಿಸು: ಕಪಟವಾದುದನ್ನು, ಮಿಥ್ಯವಾದುದನ್ನು ನನ್ನಿಂದ ತೊಲಗಿಸು; ನನಗೆ ಬಡತನ ಬೇಡ, ಐಶ್ವರ್ಯವೂ ಬೇಡ, ಸಾಕಷ್ಟು ಆಹಾರವನ್ನು ಮಾತ್ರ ನೀಡು. ಎಲ್ಲವೂ ಇದ್ದರೆ “ಸರ್ವೇಶ್ವರನು ಯಾರು?” ಎಂದು ನಿನ್ನನ್ನೆ ನಾನು ತಿರಸ್ಕರಿಸೇನು. ಬಡವನಾದರೆ ಕಳ್ಳತನ ಮಾಡಿ ನನ್ನ ದೇವರಾದ ನಿನ್ನ ಹೆಸರಿಗೆ ಅಪಕೀರ್ತಿ ತಂದೇನು.

ಕೀರ್ತನೆ: 119:29, 72, 89, 101, 104, 163

ಶ್ಲೋಕ: ನಿನ್ನ ವಾಕ್ಯ ನನ್ನ ಕಾಲಿನ ನಡೆಗೆ ಕೈದೀಪ 

1.  ಮಿಥ್ಯಮಾರ್ಗವನು ನನಗೆ ದೂರಮಾಡಯ್ಯಾ|
ಧರ್ಮಶಾಸ್ತ್ರವನು ಎನಗೆ ಅನುಗ್ರಹಿಸಯ್ಯಾ||
ಸಾವಿರಾರು ಚಿನ್ನ ಬೆಳ್ಳಿ ನಾಣ್ಯಗಳಿಗಿಂತ|
ನಿನ್ನ ಬಾಯಿಂದ ಬಂದ ಧರ್ಮಶಾಸ್ತ್ರ ಉಚಿತ||
ಶ್ಲೋಕ


2.  ಹೇ ಪ್ರಭೂ, ನಿನ್ನ ವಾಕ್ಯ ಶಾಶ್ವತ|
ಸ್ವರ್ಗಲೋಕದಲಿ ಅದು ಚಿರ ಶಾಶ್ವತ||
ನಿನ್ನ ವಾಕ್ಯವನು ಅನುಸರಿಸುವ ಧೈರ್ಯದಿಂದ|
ನನ್ನ ಹೆಜ್ಜೆಗಳನು ತಡೆದೆನು ದುರ್ಮಾಗದಿಂದ||
ಶ್ಲೋಕ

3.  ವಿವೇಕಿಯಾದೆನು ನಿನ್ನ ನಿಯಮಗಳ ಮೂಲಕ|
ದ್ವೇಷಿಸುತಿಹೆನು ಪ್ರತಿಯೊಂದು ಮಿಥ್ಯಾಮಾರ್ಗ||
ಹಿಡಿಸದು ಎನಗೆ ಮಿಥ್ಯವಾದುದು, ಅದು ಎನಗೆ ಅಸಹ್ಯ|
ನಿನ್ನ ಧರ್ಮಶಾಸ್ತ್ರವಾದರೋ ನನಗೆ ಸುಪ್ರಿಯ||
ಶ್ಲೋಕ

ಶುಭಸಂದೇಶ: ಲೂಕ 9:1-6 

ಯೇಸುಸ್ವಾಮಿ ಹನ್ನೆರಡು ಮಂದಿ ಪ್ರೇಷಿತರನ್ನು ಒಟ್ಟಿಗೆ ಕರೆದು ಎಲ್ಲ ದೆವ್ವಗಳನ್ನು ಬಿಡಿಸಲೂ ರೋಗ ನಿವಾರಣೆಮಾಡಲೂ ಅವರಿಗೆಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು. ಅನಂತರ ದೇವರ ಸಾಮ್ರಾಜ್ಯವನ್ನು ಕುರಿತು ಬೋಧಿಸುವುದಕ್ಕೂ ರೋಗಿಗಳನ್ನು ಗುಣಪಡಿಸುವುದಕ್ಕೂ ಅವರನ್ನು ಕಳುಹಿಸಿದರು. ಕಳುಹಿಸುವಾಗ ಅವರಿಗೆ ಇಂತೆಂದರು, “ಪ್ರಯಾಣಕ್ಕೆಂದು ಏನನ್ನೂ ತೆಗೆದುಕೊಳ್ಳಬೇಡಿ; ದಂಡ, ಜೋಳಿಗೆ, ಬುತ್ತಿ ಅಥವಾ ಹಣ ಯಾವುದೂ ಬೇಡ. ಎರಡು ಅಂಗಿಗಳೂ ಬೇಕಾಗಿಲ್ಲ. ಯಾವ ಮನೆಯವರು ನಿಮ್ಮನ್ನು ಬರಮಾಡಿಕೊಳ್ಳುತ್ತಾರೋ ಆ ಮನೆಯಲ್ಲೇ ತಂಗಿರಿ. ಅಲ್ಲಿಂದಲೇ ಮುಂದಕ್ಕೆ ಸಾಗಿರಿ. ಯಾವ ಊರಿನವರಾದರೂ ನಿಮ್ಮನ್ನು ಸ್ವಾಗತಿಸದೆ ಹೋದಲ್ಲಿ, ನೀವು ಆ ಊರನ್ನು ಬಿಟ್ಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ,” ಎಂದರು. ಪ್ರೇಷಿತರು ಹೊರಟು ಹಳ್ಳಿಹಳ್ಳಿಗೂ ಹೋಗಿ ಎಲ್ಲ ಕಡೆ ಶುಭಸಂದೇಶವನ್ನು ಬೋಧಿಸಿದರು; ರೋಗಿಗಳನ್ನು ಗುಣಪಡಿಸಿದರು.

22.09.226 - IIಮಂಗಳವಾರII ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿ ಮತ್ತು ಅಣ್ಣತಮ್ಮಂದಿರು


 ಮೊದಲನೇ ವಾಚನ: ಜ್ಞಾನೋಕ್ತಿಗಳು  21:1-6, 10-13

ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ. ಮಾನವರ ನಡವಳಿಕೆ ಅವರವರ ನೋಟಕ್ಕೆ ನೇರ; ಅವರ ಅಂತರಂಗವನ್ನು ವೀಕ್ಷಿಸಬಲ್ಲವನೋ ಸರ್ವೇಶ್ವರ. ನ್ಯಾಯನೀತಿಗಳು ಬಲಿಯರ್ಪಣೆಗಿಂತ ಶ್ರೇಷ್ಠ; ಸರ್ವೇಶ್ವರನಿಗೆ ಅವು ಬಲು ಇಷ್ಟ. ಗರ್ವದ ನೋಟ, ಉಬ್ಬಿದ ಎದೆ, ಇವು ದುರುಳರೊಳು ಕಾಣುವ ಪಾಪದ ಕಿಡಿಗಳು. ಶ್ರಮಜೀವಿಗಳ ಯೋಜನೆಯಿಂದ ಸಮೃದ್ಧಿ; ತಾಳ್ಮೆಯಿಲ್ಲದ ತ್ವರೆಯಿಂದ ಅಧೋಗತಿ. ಹಬೆಯಂತೆ ನಾಪತ್ತೆ ಸುಳ್ಳಿನಿಂದ ಸಿಕ್ಕಿದ ಸಂಪತ್ತು; ಮೃತ್ಯುಪಾಶದಂತೆ ಅದೊಂದು ವಿಪತ್ತು. ದುರಾತ್ಮನ ಮನಸ್ಸು ಕೇಡಿನ ಮೇಲೆ; ದಯೆತೋರಿಸನಾತ ನೆರೆಯವನ ಮೇಲೆ. ಕುಚೋದ್ಯನಿಗೆ ದಂಡನೆಯಾದರೆ ಮುಗ್ಧನಿಗೆ ಜ್ಞಾನಗಳಿಕೆ; ಜ್ಞಾನಿಗೆ ಶಿಕ್ಷೆಯಾದರೆ ತಾನೆ ಹೊಂದುವನು ತಿಳುವಳಿಕೆ. ಸತ್ಯಸ್ವರೂಪನ ದೃಷ್ಟಿ ದುಷ್ಟರ ಮನೆಯ ಮೇಲೆ; ಆ ದುರುಳರನ್ನು ದಬ್ಬಿಬಿಡುವನು ಕೇಡಿಗೆ. ಬಡವನ ಮೊರೆಗೆ ಕಿವಿ ಮುಚ್ಚಿಕೊಳ್ಳುವವನೇ, ನೀನೇ ಮೊರೆಯಿಡುವಾಗ ಉತ್ತರಕೊಡುವವರಾರು ನಿನಗೆ?

ಕೀರ್ತನೆ: 119:1, 27, 30, 34, 35, 44

ಶ್ಲೋಕ: ಎನ್ನ ನಡೆಸು ಪ್ರಭೂ, ನಿನ್ನ ಆಜ್ಞಮಾರ್ಗದಲಿ 

1.  ಪ್ರಭುವಿನ ಶಾಸ್ತ್ರಾನುಸಾರ ನಡೆವವರು ಧನ್ಯರು|
ದೋಷರಹಿತ ಮಾರ್ಗದಲಿ ನಡೆವವರು ಧನ್ಯರು||
ನಿನ್ನ ನಿಯಮಗಳ ಪಥವನೆನಗೆ ತಿಳಿಯಪಡಿಸಯ್ಯಾ|  
ನಿನ್ನ ಅದ್ಭುತಕಾರ್ಯಗಳನು ನಾ ಧ್ಯಾನಿಸುವೆನಯ್ಯಾ||
ಶ್ಲೋಕ

2.  ಆರಿಸಿಕೊಂಡಿರುವೆನು ನಾನು ಸತ್ಯ ಮಾರ್ಗವನು|
ಇರಿಸಿಕೊಂಡಿಹನು ಕಣ್ಮುಂದೆ ನಿನ್ನ ವಿಧಿಗಳನು||
ನೀಡೆನಗೆ ನಿನ್ನ ಶಾಸ್ತ್ರದ ಅರಿವನು|
ಪೂರ್ಣ  ಮನದಿಂದ ಆಚರಿಸುವೆನದನು||
ಶ್ಲೋಕ

3.  ಎನ್ನ ನಡೆಸು ನಿನ್ನ ಆಜ್ಞಾಮಾರ್ಗದಲಿ|
ಪಡೆಯುವೆ ಹರ್ಷಾನಂದವನು ಅದರಲಿ||
ಸತತ ನಿನ್ನ ಧರ್ಮಶಾಸ್ತ್ರವನು ಕೈಗೊಳ್ಳುವೆ|
ಯುಗಯುಗಾಂತರಕು ಅದನು ಪರಿಪಾಲಿಸುವೆ||
ಶ್ಲೋಕ

ಘೋಷಣೆ
(ಯೊವಾನ್ನ 10: 27)
ಅಲ್ಲೆಲೂಯ, ಅಲ್ಲೆಲೂಯ.
ನನ್ನ  ಕುರಿಗಳಾದರೊ  ನನ್ನ  ಸ್ವರವನ್ನು  ಗುರುತಿಸುತ್ತವೆ | ನಾನು  ಅವನ್ನು  ಬಲ್ಲೆನು;  ಅವು  ನನ್ನನ್ನು  ಹಿಂಬಾಲಿಸುತ್ತವೆ ||
ಅಲ್ಲೆಲೂಯ.

ಶುಭಸಂದೇಶ: ಲೂಕ 8:19-21


ಯೇಸುಸ್ವಾಮಿಯ ತಾಯಿ ಹಾಗೂ ಸಹೋದರರು ಯೇಸು ಇದ್ದೆಡೆಗೆ ಬಂದರು. ಆದರೆ ಜನಸಂದಣಿಯ ನಿಮಿತ್ತ ಹತ್ತಿರಕ್ಕೆ ಬರಲಾಗಲಿಲ್ಲ.  ಯೇಸುವಿಗೆ, “ನಿಮ್ಮ ತಾಯಿಯು ಮತ್ತು ಸಹೋದರರು ನಿಮ್ಮನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ,” ಎಂದು ತಿಳಿಸಲಾಯಿತು.  ಅದಕ್ಕೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿ ಮತ್ತು ಅಣ್ಣತಮ್ಮಂದಿರು,” ಎಂದರು.

21.09.2026 - IIಸೋಮವಾರIIನನ್ನನ್ನು ಹಿಂಬಾಲಿಸು

 ಮೊದಲನೇ ವಾಚನ: ಎಫೆಸಿಯರಿಗೆ 4:1-7, 11-13



ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿರುವ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ. ಯಾವಾಗಲು ದೀನದಯಾಳತೆ, ವಿನಯಶೀಲತೆ ಹಾಗೂ ಶಾಂತಿಸಮಾಧಾನವುಳ್ಳವರಾಗಿರಿ. ಪರಸ್ಪರ ಪ್ರೀತಿಯಿಂದಲೂ ಸಹನೆಯಿಂದಲೂ ವರ್ತಿಸಿರಿ. ಪವಿತ್ರಾತ್ಮರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ. ಅದು ನಿಮ್ಮನ್ನು ಸಮಾಧಾನದಲ್ಲಿ ಬಂಧಿಸುವುದು. ನೀವೆಲ್ಲರೂ ಒಂದೇ ಶರೀರಕ್ಕೆ ಸೇರಿದವರು; ಒಬ್ಬರೇ ಪವಿತ್ರಾತ್ಮರನ್ನು ಪಡೆದವರು; ಒಂದೇ ನಿರೀಕ್ಷೆಗಾಗಿ ಕರೆಹೊಂದಿದವರು. ನಮ್ಮೆಲ್ಲರಿಗೂ ಪ್ರಭೂ ಒಬ್ಬರೇ; ವಿಶ್ವಾಸವೂ ಒಂದೇ; ದೀಕ್ಷಾಸ್ನಾನವೂ ಒಂದೇ, ದೇವರೂ ಒಬ್ಬರೇ, ಸರ್ವರ ತಂದೆಯೂ ಇವರೇ; ಸರ್ವಶ್ರೇಷ್ಟರೂ ಅವರೇ; ಸರ್ವರ ಮುಲಕ ಕಾರ್ಯ ನಿರ್ವಹಿಸುವವರೂ ಅವರೇ ಮತ್ತು ಸಮಸ್ತರಲ್ಲಿ ವಾಸಿಸುವವರೂ ಅವರೇ. ಆದರೂ ನಮ್ಮಲ್ಲಿ ಪ್ರತಿಯೊಬ್ಬನೂ ಕ್ರಿಸ್ತ ಯೇಸು ಅನುಗ್ರಹಿಸಿರುವ ಪ್ರಕಾರವೇ ವರಗಳನ್ನು ಪಡೆದಿದ್ದಾನೆ. ಎಂತಲೇ ಪವಿತ್ರಗ್ರಂಥದಲ್ಲಿ ಹೀಗಿದೆ: ಈ ವೆಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು. ದೇವಜನರನ್ನು ಪರಿಣತರನ್ನಾಗಿಸಿ ದೇವರ ಸೇವೆಗೆ ಸಿದ್ಧಗೊಳಿಸಲೆಂದು ಮತ್ತು ಯೇಸುಕ್ರಿಸ್ತರದೇಹವಾದ ಧರ್ಮಸಭೆ ಅಭಿವೃದ್ಧಿ ಹೊಂದಲೆಂದು ಈ ವರಗಳನ್ನು ಅವರಿಗೆ ನೀಡಿದರು. ಹೀಗೆ ನಾವೆಲ್ಲರೂ ಒಂದೇ ವಿಶ್ವಾಸದಿಂದಲೂ ದೇವರ ಪುತ್ರನನ್ನು ಕುರಿತ ಜ್ಞಾನದಿಂದಲೂ ಐಕ್ಯಮತ್ಯವನ್ನು ಮತ್ತು ಪರಿಪಕ್ವತೆಯನ್ನು ಪಡೆಯುತ್ತೇವೆ. ಜ್ಞಾನಾರ್ಜನೆಯನ್ನು ಪಡೆದವರಾಗಿ, ಕ್ರಿಸ್ತ ಯೇಸುವಿನ ಪರಿಪೂರ್ಣತೆಯ ಮಟ್ಟವನ್ನು ಮುಟ್ಟುತ್ತೇವೆ.

ಕೀರ್ತನೆ: 19:2-3, 4-5

ಶ್ಲೋಕ: ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ

1.  ಆಕಾಶಮಂಡಲ ಸಾರುತಿದೆ ದೇವರ ಮಹಿಮೆಯನು|
ತಾರಾಮಂಡಲ ತೋರುತ್ತಿದೆ ದೇವರ ಕೈಕೃತಿಗಳನು||
ದಿನವು ಮರುದಿನಕೆ ಮಾಡುತಿದೆ ಈ ಪ್ರಕಟಣೆಯನು|
ರಾತ್ರಿ ಮರುರಾತ್ರಿಗೆ ನೀಡುತಿದೆ ಈ ಪ್ರಚಾರವನು||
ಶ್ಲೋಕ

2.  ಅವುಗಳಿಗೆ ಮಾತಿಲ್ಲ, ಅವುಗಳಿಗೆ ಶಬ್ಧವಿಲ್ಲ|
ಅವುಗಳ ಸ್ವರವಂತೂ ಕೇಳಿ ಬರುವುದಿಲ್ಲ||
ಆದರೂ ಅವುಗಳ ಧ್ವನಿರೇಖೆ ಹರಡಿದೆ ಬುವಿಯಾದ್ಯಂತ|
ಅವುಗಳ ನುಡಿ ಮಾತು ವ್ಯಾಪಿಸಿದೆ ಜಗದಾದ್ಯಂತ||
ಶ್ಲೋಕ

ಘೋಷಣೆ

ಅಲ್ಲೆಲೂಯ, ಅಲ್ಲೆಲೂಯ.
ನೀವೇ  ನಮ್ಮ  ಪ್ರಭುವೆಂದು  ನಿಮ್ಮನ್ನು  ಅಂಗೀಕರಿಸುತ್ತೇವೆ; | ಪ್ರೇಷಿತರ  ಮಹಿಮಾವೃಂದವು  ನಿಮ್ಮನ್ನು  ಸ್ತುತಿಸಲಿ,  ಓ ಪ್ರಭೂ||
ಅಲ್ಲೆಲೂಯ.

ಶುಭಸಂದೇಶ: ಮತ್ತಾಯ  9:9-13

ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಮುಂದಕ್ಕೆ ಹೋಗುತ್ತಿದ್ದಾಗ ಮತ್ತಾಯ ಎಂಬುವನನ್ನು ಕಂಡರು. ಅವನು ಸಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತ್ತಿದ್ದನು. "ನನ್ನನ್ನು ಹಿಂಬಾಲಿಸು," ಎಂದು ಹೇಳಿ ಯೇಸು ಅವನನ್ನು ಕರೆದರು. ಮತ್ತಾಯನು ಎದ್ದು ಅವರನ್ನು ಹಿಂಬಾಲಿಸಿದನು. ಇದಾದ ಮೇಲೆ ಯೇಸುಸ್ವಾಮಿ ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ಸುಂಕದವರೂ ಪಾಪಿಷ್ಠರು ಅಲ್ಲಿಗೆ ಬಂದರು. ಯೇಸು ಮತ್ತು ಅವರ ಶಿಷ್ಯರು ಕುಳಿತಿದ್ದ ಪಂಕ್ತಿಯಲ್ಲೇ ಇವರೂ ಊಟಕ್ಕೆ ಕುಳಿತರು. ಫರಿಸಾಯರು ಇದನ್ನು ಕಂಡದ್ದೇ ಯೇಸುವಿನ ಶಿಷ್ಯರನ್ನುದ್ದೇಶಿಸಿ, "ನಿಮ್ಮ ಗುರು ಇಂತಹ ಬಹಿಷ್ಕ್ರತ ಜನರ ಜೊತೆಯಲ್ಲಿ ಊಟ ಮಾಡುವುದೇ?" ಎಂದು ಆಕ್ಷೇಪಿಸಿದರು. ಇದನ್ನು ಕೇಳಿಸಿಕೊಂಡ ಯೇಸು, "ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ; ಆರೋಗ್ಯವಂತರಿಗಲ್ಲ. ನೀವು ಹೋಗಿ, "ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ" ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು," ಎಂದರು.

20.09.2026 - ಕಡೆಯವರು ಮೊದಲಿನವರಾಗುವರು; ಮೊದಲಿನವರು ಕಡೆಯವರಾಗುವರು





ಮೊದಲನೇ ವಾಚನ: ಯೆಶಾಯ 55:6-9

ಅರಸಿರಿ ಸರ್ವೇಶ್ವರನನು ಆತ ದೊರಕುವ ವೇಳೆಯಲಿ ವಿನಂತಿಸಿರಿ ಆತನಿರುವಾಗಲೆ ಸಮೀಪದಲಿ. ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ. “ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಂಥಲ್ಲ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಂಥಲ್ಲ” ಎಂದಿಹನು ಸರ್ವೇಶ್ವರ. “ಎಷ್ಟೋ ಉನ್ನತ ಆಕಾಶವು ಭೂಮಿಯಿಂದ ಅಷ್ಟೂ ಉನ್ನತ ನನ್ನ ಮಾರ್ಗ ನಿಮ್ಮ ಮಾರ್ಗಗಳಿಗಿಂತ, ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತ.

ಕೀರ್ತನೆ:145:2-3, 8-9, 17-18

ಶ್ಲೋಕ: ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ 

1.  ಯುಗಯುಗಾಂತರಕ್ಕೂ ನಿನ್ನ ನಾಮಕ್ಕೆ ನಮನ|
ಹೊಗಳುವೆನು ನಾ ದಿನ ದಿನವೂ ನಿನ್ನನು||
ಪ್ರಭು ಮಹಾತ್ಮನು, ಸ್ತುತ್ಯಾರ್ಹನು|
ಆತನ ಮಹಿಮೆ ಅಗಮ್ಯವಾದುದು||
ಶ್ಲೋಕ

2.  ಪ್ರಭು ದಯಾನಿಧಿ, ಕೃಪಾಸಾಗರನು|
ಸಹನಶೀಲನು, ಪ್ರೀತಿಪೂರ್ಣನು||
ಪ್ರಭುವಿನ ಕರುಣೆ ಎಲ್ಲರ ಮೇಲೆ|
ಆತನ ಕೃಪೆಯು ಸೃಷ್ಟಿಯ ಮೇಲೆ||
ಶ್ಲೋಕ

3.  ಪ್ರಭುವಿನ ಮಾರ್ಗ ಧರ್ಮಸಮ್ಮತ|
ಆತನ ಕಾರ್ಯವೆಲ್ಲ ಪುನೀತ||
ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ|
ಯಥಾರ್ಥವಾಗಿ ಆತನನು ಅರಸುವವರಿಗೆ||
ಶ್ಲೋಕ

ಎರಡನೇ ವಾಚನ: ಫಿಲಿಪ್ಪಿಯರಿಗೆ 1:20-24, 27

ಸಹೋದರರೇ, ನನ್ನ ಕರ್ತವ್ಯಪಾಲನೆಯಲ್ಲಿ ನಾಚುವಂಥ ಸಂದರ್ಭವು ನನಗೆಂದಿಗೂ ಬರದೆಂದು ಬಲ್ಲೆ; ನಾನು ಬದುಕಿದರೂ ಸರಿ, ಸತ್ತರೂ ಸರಿ; ನನ್ನ ದೇಹದ ಮೂಲಕ ಕ್ರಿಸ್ತಯೇಸುವಿಗೆ ಎಂದಿನಂತೆ ಈಗಲೂ ಮಹಿಮೆ ಉಂಟಾಗಬೇಕೆಂಬುದೇ ನನ್ನ ಉತ್ಕಟ ಆಕಾಂಕ್ಷೆ ಹಾಗೂ ನಿರೀಕ್ಷೆ.  ನನಗಂತೂ ಬದುಕುವುದೆಂದರೆ ಕ್ರಿಸ್ತಯೇಸುವೇ; ಸಾಯುವುದು ಲಾಭವೇ.  ದೈಹಿಕವಾಗಿ ಬದುಕುವುದು ಫಲಪ್ರದವಾಗಿದ್ದರೆ, ನಾನು ಬದುಕುವುದು ಉತ್ತಮವೋ ಅಥವಾ ಸಾಯುವುದು ಸೂಕ್ತವೋ ನನಗೆ ತಿಳಿಯದು.  ಉಭಯ ಸಂಕಟಕ್ಕೆ ಸಿಲುಕಿದ್ದೇನೆ. ಒಂದು ಕಡೆ, ಈ ಬದುಕನ್ನು ತೊರೆದು ಕ್ರಿಸ್ತಯೇಸುವಿನೊಡನೆ ಒಂದಾಗಿರಬೇಕೆಂಬುದೇ ನನ್ನ ಬಯಕೆ. ಇದು ಎಷ್ಟೋ ಮೇಲಾದುದು.  ಮತ್ತೊಂದು ಕಡೆ, ನಿಮಗೋಸ್ಕರ ಇಹದಲ್ಲಿದ್ದು ಜೀವಿಸುವುದು ಅತ್ಯವಶ್ಯಕವಾಗಿದೆ. ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.

ಶುಭಸಂದೇಶ: ಮತ್ತಾಯ 20:1-16

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ಸ್ವರ್ಗಸಾಮ್ರಾಜ್ಯವು ಹೀಗಿದೆ: ಒಬ್ಬ ಯಜಮಾನನಿಗೆ ಒಂದು ದ್ರಾಕ್ಷಿತೋಟವಿತ್ತು. ಅದರಲ್ಲಿ ಕೆಲಸ ಮಾಡುವುದಕ್ಕೆ ಕೂಲಿಗಾರರನ್ನು ಗೊತ್ತುಮಾಡಲು ಅವನು ಬೆಳಗಿನ ಜಾವದಲ್ಲೇ ಹೊರಟ. ಆಳಿಗೆ ಒಂದು ಬೆಳ್ಳಿ ನಾಣ್ಯದಂತೆ ದಿನಕೂಲಿಯನ್ನು ಮಾತಾಡಿ ತೋಟಕ್ಕೆ ಕಳುಹಿಸಿದ. ಸುಮಾರು ಬೆಳಿಗ್ಗೆ ಒಂಭತ್ತು ಗಂಟೆಗೆ ಅವನು ಪುನಃ ಸಂತೆಬೀದಿಯ ಕಡೆ ಹೋದ. ಕೆಲಸವಿಲ್ಲದೆ ಸುಮ್ಮನೆ ನಿಂತುಕೊಂಡಿದ್ದ ಕೆಲವು ಕೂಲಿಗಾರರನ್ನು ಅಲ್ಲಿ ಕಂಡ. ನೀವೂ ನನ್ನ ದ್ರಾಕ್ಷಿತೋಟಕ್ಕೆ ಹೋಗಿರಿ; ನ್ಯಾಯವಾದ ಕೂಲಿಯನ್ನು ನಿಮಗೆ ಕೊಡುತ್ತೇನೆ,’ ಎಂದ. ಅವರೂ ಹೋದರು. ಬಳಿಕ ಸುಮಾರು ಹನ್ನೆರಡು ಗಂಟೆಗೊಮ್ಮೆ, ಮತ್ತೆ ಮೂರು ಗಂಟೆಗೊಮ್ಮೆ ಹೋಗಿ ಇನ್ನೂ ಕೆಲವರನ್ನು ಕೆಲಸಕ್ಕೆ ಕಳುಹಿಸಿದ. ಐದು ಗಂಟೆಗೆ ಹೋದಾಗಲೂ ಬೇರೆ ಕೆಲವರು ಅಲ್ಲಿ ನಿಂತಿರುವುದನ್ನು ಕಂಡು, ‘ದಿನವಿಡೀ ಕೆಲಸಮಾಡದೆ ಸುಮ್ಮನೆ ಇಲ್ಲಿ ನಿಂತಿದ್ದೀರಲ್ಲಾ, ಏಕೆ?’ ಎಂದು ಕೇಳಿದ. ಅದಕ್ಕೆ ಅವರು, ‘ನಮ್ಮನ್ನು ಯಾರೂ ಕೂಲಿಗೆ ಕರೆಯಲಿಲ್ಲ,’ ಎಂದರು. ‘ಹಾಗಾದರೆ ನೀವೂ ಕೂಡ ನನ್ನ ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡಿ,’ ಎಂದು ಹೇಳಿ ಅವರನ್ನೂ ಕಳುಹಿಸಿದ. “ಸಂಜೆಯಾಯಿತು, ತೋಟದ ಯಜಮಾನ ತನ್ನ ಮೇಸ್ತ್ರಿಗೆ, ‘ಕೂಲಿಯಾಳುಗಳನ್ನು ಕರೆದು, ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿಕೊಡು,’ ಎಂದ. ಅದರಂತೆ ಐದು ಗಂಟೆಗೆ ಗೊತ್ತುಮಾಡಿದವರು ಬಂದಾಗ ಒಬ್ಬೊಬ್ಬನಿಗೆ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.  ಮೊತ್ತಮೊದಲು ಗೊತ್ತುಮಾಡಿದವರು ತಮ್ಮ ಸರದಿ ಬಂದಾಗ, ತಮಗೆ ಹೆಚ್ಚು ಸಿಗುವುದೆಂದು ಭಾವಿಸಿದರು. ಆದರೆ ಅವರಿಗೂ ಒಂದೊಂದೇ ಬೆಳ್ಳಿನಾಣ್ಯ ದೊರಕಿತು.  ಅದನ್ನು ತೆಗೆದುಕೊಂಡಾಗ ಅವರು ದಣಿಯ ವಿರುದ್ಧ ಗೊಣಗಲಾರಂಭಿಸಿದರು.  ‘ಕಡೇಹೊತ್ತಿನಲ್ಲಿ ಬಂದ ಇವರು ಒಂದೇ ಒಂದು ಗಂಟೆ ಕೆಲಸಮಾಡಿದ್ದಾರೆ, ಬಿಸಿಲಲ್ಲಿ ಬೆಂದು, ದಿನವೆಲ್ಲಾ ದುಡಿದ ನಮ್ಮನ್ನು ಇವರಿಗೆ ಸರಿಸಮಮಾಡಿದ್ದೀರಲ್ಲಾ!’ ಎಂದರು.  ಅದಕ್ಕೆ ಯಜಮಾನ ಅವರಲ್ಲಿ ಒಬ್ಬನಿಗೆ, ‘ಅಯ್ಯಾ, ನಿನಗೆ ನಾನು ಅನ್ಯಾಯಮಾಡಿಲ್ಲ. ದಿನಕ್ಕೊಂದು ಬೆಳ್ಳಿನಾಣ್ಯದಂತೆ ನೀನು ನನ್ನೊಡನೆ ಒಪ್ಪಂದಮಾಡಿಕೊಳ್ಳಲಿಲ್ಲವೆ?  ನಿನ್ನ ಕೂಲಿ ಏನೋ ಅದನ್ನು ತೆಗೆದುಕೊಂಡು ಹೋಗು. ನಿನಗೆ ಕೊಟ್ಟಷ್ಟನ್ನು ಈ ಕಟ್ಟಕಡೆಯವನಿಗೂ ಕೊಡುವುದು ನನ್ನ ಇಷ್ಟ.  ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ.  ಹೀಗೆ, ಕಡೆಯವರು ಮೊದಲಿನವರಾಗುವರು; ಮೊದಲಿನವರು ಕಡೆಯವರಾಗುವರು.”

19.09.2026 -IIಶನಿವಾರII ದೇವರ ಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶವನ್ನು ನಿಮಗೆ ಕೊಡಲಾಗಿದೆ


ಮೊದಲನೇ ವಾಚನ: 1ತಿಮೊಥೇಯನಿಗೆ 6:13-16



ಅತಿ ಪ್ರಿಯನೇ, ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ, ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸಿಸುವುದೇನೆಂದರೆ: ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷರಾಗುವ ತನಕ ಯಾವ ದೋಷಾರೋಪಣೆಗೂ ಎಡೆಗೊಡದೆ ಈ ಕಟ್ಟಳೆಗಳೆಲ್ಲವನ್ನೂ ಪ್ರಾಮಾಣಿಕತೆಯಿಂದ ಅನುಸರಿಸು: ಸೂಕ್ತಕಾಲದಲ್ಲಿ ಕ್ರಿಸ್ತ ಯೇಸುವಿನು ಪ್ರತ್ಯಕ್ಷಪಡಿಸುವನು ಪರಮ ದೇವನು. ಆ ದೇವನು ಪರಮಾನಂದನು, ಏಕಾಧಿಪತಿ, ರಾಜಾಧಿರಾಜನು ಒಡೆಯರಿಗೆಲ್ಲಾ ಒಡೆಯನು, ಅಮರನು ಅಗಮ್ಯ ಜ್ಯೋತಿಯಲಿ ವಾಸಿಸುವವನು. ಆತನನು ಕಂಡವರಾರೂ ಇಲ್ಲ, ಕಾಣಬಲ್ಲವರಾರೂ ಇಲ್ಲ. ಆತನೊಬ್ಬನಿಗೆ ಮಹಿಮೆಯೂ ಗೌರವವೂ ಪ್ರಭುತ್ವವೂ ಸಲ್ಲಲಿ ಎಂದೆಂದಿಗೂ, ಆಮೆನ್.

ಕೀರ್ತನೆ 100:1-2, 3, 4, 5
ಶ್ಲೋಕ: ಹಾಡುತ, ಪಾಡುತ, ಬನ್ನಿ ಪ್ರಭುವಿನ ಸನ್ನಿಧಿಗೆ.

ಭೂನಿವಾಸಿಗಳೇ, ಜಯಘೋಷಮಾಡಿ ಪ್ರಭುವಿಗೆ|
ಅತಿ ಸಂತೋಷದಿಂದ ಸೇವೆಮಾಡಿ ಆತನಿಗೆ|
ಹಾಡುತ, ಪಾಡುತ, ಬನ್ನಿ ಆತನ ಸನ್ನಿಧಿಗೆ||

ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು|
ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು|
ಆತನ ಜನ ಆತನೇ ಮೇಯಿಸುವ ಕುರಿಗಳು ನಾವು||

ಆತನ ಗೃಹದ್ವಾರವನು ಪ್ರವೇಶಿಸಿ ಧನ್ಯವಾದಗಳೊಂದಿಗೆ|
ಆತನ ಆವರಣದಲಿ ನಿಲ್ಲಿರಿ ಸ್ತುತಿಸ್ತೋತ್ರಗಳೊಂದಿಗೆ|
ಆತನ ನಾಮವನು ಕೊಂಡಾಡಿ ಉಪಕಾರಸ್ಮರಣೆಯೊಂದಿಗೆ||

ಹೌದು ಪ್ರಭುವೆನಿತೋ ಒಳ್ಳೆಯವನು|
ಇರುವುದು ಆತನ ಪ್ರೀತಿ ಯುಗಯುಗಕೂ|
ಆತನ ಸತ್ಯತೆ ತಲತಲಾಂತರಕು||

ಘೋಷಣೆ
(ಯೊವಾನ್ನ 6: 63, 68)

ಅಲ್ಲೆಲೂಯ, ಅಲ್ಲೆಲೂಯ.
ಸಜ್ಜೀವವನ್ನು ಕೊಡುವಂಥದ್ದು ದೇವರ ಆತ್ಮವೇ | ನಿತ್ಯ ಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ||
ಅಲ್ಲೆಲೂಯ.

ಶುಭಸಂದೇಶ:  ಲೂಕ 8:4-15


ಜನರು ಊರುರುಗಳಿಂದ ಹೊರಟು ಯೇಸುವಿನ ಬಳಿಗೆ ಬಂದರು. ಜನಸಮೂಹವು ಹೆಚ್ಚುತ್ತಿದ್ದಂತೆ ಯೇಸು ಈ ಸಾಮತಿಯನ್ನು ಹೇಳಿದರು: " ಒಬ್ಬ ರೈತನು ಬಿತ್ತುವುದಕ್ಕೆ ಹೋದನು. ಬಿತ್ತನೆ ಮಾಡುತ್ತಿದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಅವು ಕಾಲುತುಳಿತಕ್ಕೆ ಸಿಕ್ಕಿ ಹೋದವು. ಅವುಗಳನ್ನು ಆಕಾಶದ ಪಕ್ಷಿಗಳು ತಿಂದುಬಿಟ್ಟನು. ಮತ್ತೆ ಕೆಲವು ಬೀಜಗಳು ಕಲ್ಲುಭೂಮಿಯ ಮೇಲೆ ಬಿದ್ದವು. ಅವು ಮೊಳೆತಾಗಲೂ ತೇವವಿಲ್ಲದ ಕಾರಣ ಒಣಗಿ ಹೋದವು. ಇನ್ನೂ ಕೆಲವು ಮುಳ್ಳು ಪೂದೆಗಳ ನಡುವೆ ಬಿದ್ದವು. ಮುಳ್ಳುಪೊದೆಗಳು ಅವುಗಳೊಡನೆ ಬೆಳೆದು ಸಸಿಗಳನ್ನು ಅದುಮಿಬಿಟ್ಟವು. ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಬೆಳೆದು ನೂರ್ಮಡಿ ಫಸಲನ್ನು ಕೊಟ್ಟವು, " ಈ ಸಾಮತಿಯನ್ನು ಮುಗಿಸಿದ ಮೇಲೆ ಯೇಸು, " ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ, "ಎಂದು ಒತ್ತಿ ಹೇಳಿದರು. ಶಿಷ್ಯರು, 'ಈ ಸಾಮತಿಯ ಅರ್ಥವೇನು?' ಎಂದು ಕೇಳಿದಾಗ, ಯೇಸು ಇಂತೆಂದರು: " ದೇವರ ಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶವನ್ನು ನಿಮಗೆ ಕೊಡಲಾಗಿದೆ. ಬೇರೆಯವರಿಗಾದರೋ ಅವು ಸಾಮತಿಗಳ ರೂಪದಲ್ಲಿ ಮರೆಯಾಗಿವೆ. ಅವರು ಕಣ್ಣಾರೆ ನೋಡಿದರೂ ಕಾಣರು, ಕಿವಿಯಾರೆ ಕೇಳಿದರೂ ಗ್ರಹಿಸರು. ಸಾಮತಿಯ ಅರ್ಥ ಹೀಗಿದೆ: ಬೀಜ ಎಂದರೆ ದೇವರ ವಾಕ್ಯ. ಕಾಲ್ದಾರಿಯಲ್ಲಿ ಬಿದ್ದ ಬೀಜಗಳು ಎಂದರೆ ಆ ವಾಕ್ಯವನ್ನು ಕೇಳಿದವರು, ಆದರೆ ಅವರು ವಿಶ್ವಾಸಿಸಿ ಜೀವೋದ್ಧಾರವನ್ನು ಪಡೆಯದಂತೆ ಪಿಶಾಚಿ ಬಂದು ಆ ವಾಕ್ಯವನ್ನು ಅವರ ಹೃದಯದಿಂದ ಕೂಡಲೇ ತೆಗೆದುಬಿಡುತ್ತದೆ. ಕಲ್ಲುಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಸಂತೋಷದಿಂದ ಸ್ವೀಕರಿಸಿದವರು, ಅದು ಅವರಲ್ಲಿ ಬೇರೂರದ ಕಾರಣ ಅವರು ಸ್ವಲ್ಪ ಕಾಲ ವಿಶ್ವಾಸಿಸುತ್ತಾರೆ, ಶೋಧನೆಯ ಸಮಯದಲ್ಲಿ ಅದನ್ನು ತೊರೆದುಬಿಡುತ್ತಾರೆ. ಮುಳ್ಳುಪೊದೆಗಳ ನಡುವೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿದ ಇನ್ನಿತರರು. ಆದರೆ ಕಾಲ ಕ್ರಮೇಣ ಬಾಳಿನ ಬವಣೆಗಳು, ಐಶ್ವರ್ಯದ ವ್ಯಾಮೋಹಗಳು ಹಾಗೂ ಸುಖಭೋಗಗಳು ಇವರನ್ನು ಅದುಮಿ ಬಿಡುತ್ತವೆ, ಇವರ ಫಲ ಪಕ್ವವಾಗುವುದಿಲ್ಲ. ಹದವಾದ ಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣಶೀಲ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು ಸಹನೆಯಿಂದ ಫಲತರುವವರು, " ಎಂದರು.

18.09.2026 -IIಶುಕ್ರವಾರIIII ಇಂದಿನ ಬೈಬಲ್ ವಾಚನಗಳುIIಇವರು ತಮ್ಮ ಆಸ್ತಿಪಾಸ್ತಿಯನ್ನು ವೆಚ್ಚಮಾಡಿ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರ ಮಾಡುತ್ತಿದ್ದರು.

  ಮೊದಲನೇ ವಾಚನ: 1 ಕೊರಿಂಥಿಯರಿಗೆ 15:12-20


ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದರು ಎಂದು ನಾವು ಸಾರುತ್ತಿರುವಲ್ಲಿ, ಸತ್ತವರು ಪುನರುತ್ಥಾನರಾಗುವುದಿಲ್ಲ ಎಂದು ನಿಮ್ಮಲ್ಲಿ ಕೆಲವರು ವಾದಿಸುವುದು ಹೇಗೆ? ಸತ್ತವರಿಗೆ ಪುನರುತ್ಥಾನ ಇಲ್ಲವೆಂಬುದು ನಿಜವಾದರೆ ಕ್ರಿಸ್ತಯೇಸು ಪುನರುತ್ಥಾನ ಹೊಂದಲಿಲ್ಲ ಎಂದ ಹಾಗಾಯಿತು. ಕ್ರಿಸ್ತಯೇಸು ಪುನರುತ್ಥಾನರಾಗಲಿಲ್ಲ ಎಂದರೆ ನಮ್ಮ ಬೋಧನೆ ಬರಿದು; ನಿಮ್ಮ ವಿಶ್ವಾಸವೂ ಬರಿದು. ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂಬುದು ನಿಜವಾದರೆ ದೇವರು ಕ್ರಿಸ್ತಯೇಸುವನ್ನು ಪುನರುತ್ಥಾನಗೊಳಿಸಿಲ್ಲ ಎಂದಂತಾಯಿತು. ದೇವರು ಕ್ರಿಸ್ತಯೇಸುವನ್ನು ಸಾವಿನಿಂದ ಪುನರುತ್ಥಾನಗೊಳಿಸಿದ್ದಾರೆ ಎಂದು ಸಾಕ್ಷಿ ಹೇಳಿದ ನಾವು ಆಗ ದೇವರ ಬಗ್ಗೆಯೇ ಸುಳ್ಳುಸಾಕ್ಷಿ ಹೇಳಿದಂತಾಯಿತು. ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂದರೆ ಕ್ರಿಸ್ತಯೇಸುವು ಪುನರುತ್ಥಾನ ಹೊಂದಲಿಲ್ಲ ಎಂದಂತಾಯಿತು. ಕ್ರಿಸ್ತಯೇಸುವೇ ಪುನರುತ್ಥಾನ ಹೊಂದಿಲ್ಲ ಎಂದಮೇಲೆ ನಿಮ್ಮ ವಿಶ್ವಾಸವೇ ನಿರರ್ಥಕ; ಮತ್ತು ನೀವಿನ್ನೂ ನಿಮ್ಮ ಪಾಪಗಳಲ್ಲಿಯೇ ಮುಳುಗಿದ್ದೀರಿ; ಅಷ್ಟೇ ಅಲ್ಲದೆ, ಕ್ರಿಸ್ತಯೇಸುವಿನಲ್ಲಿ ಮೃತರಾದವರೆಲ್ಲರೂ ವಿನಾಶವಾದರು. ಕ್ರಿಸ್ತಯೇಸುವಿನಲ್ಲಿ ನಮಗಿರುವ ನಂಬಿಕೆ ಕೇವಲ ಬದುಕಿಗೆ ಸೀಮಿತವಾಗಿದ್ದರೆ ಜಗತ್ತಿನಲ್ಲಿ ನಮಗಿಂತ ನಿರ್ಭಾಗ್ಯರು ಬೇರೆ ಯಾರೂ ಇಲ್ಲ. ಕ್ರಿಸ್ತಯೇಸು ಪುನರುತ್ಥಾನಹೊಂದಿದ್ದೇನೋ ಸತ್ಯಸ್ಯ ಸತ್ಯ. ಅವರ ಪುನರುತ್ಥಾನವು, ಸತ್ತವರು ಪುನರುತ್ಥಾನ ಹೊಂದುತ್ತಾರೆ ಎನ್ನುವುದಕ್ಕೆ ಪ್ರಮಾಣ.

ಕೀರ್ತನೆ: 17:1, 6-7, 8, 15

ಶ್ಲೋಕ: ಪ್ರಭೂ, ನಿನ್ನ ಮಖದರ್ಶನದಿಂದ ನಾನು ಎಚ್ಚತ್ತು ತೃಪ್ತನಾಗುವೇನು. 

ಶುಭಸಂದೇಶ: ಲೂಕ 8:1-3

ಯೇಸುಸ್ವಾಮಿ ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಸಾರುತ್ತಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚಾರಮಾಡಿದರು. ಹನ್ನೆರಡು ಮಂದಿ ಶಿಷ್ಯರೂ ಅವರೊಡನೆ ಇದ್ದರು.  ದೆವ್ವಗಳ ಕಾಟದಿಂದಲೂ ರೋಗರುಜಿನಗಳಿಂದಲೂ ಬಿಡುಗಡೆ ಹೊಂದಿದ್ದ ಕೆಲವು ಮಹಿಳೆಯರು ಅವರ ಜೊತೆಯಲ್ಲಿದ್ದರು. ಅವರಾರೆಂದರೆ: ಏಳು ದೆವ್ವಗಳಿಂದ ವಿಮುಕ್ತಳಾಗಿದ್ದ ಮಗ್ದಲದ ಮರಿಯಳು,  ಹೆರೋದನ ಅರಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಪತ್ನಿ ಯೊವಾನ್ನಳು, ಅಲ್ಲದೆ ಸುಸಾನ್ನಳು, ಮತ್ತಿತರ ಅನೇಕರು. ಇವರು ತಮ್ಮ ಆಸ್ತಿಪಾಸ್ತಿಯನ್ನು ವೆಚ್ಚಮಾಡಿ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರ ಮಾಡುತ್ತಿದ್ದರು.

17.09.2026 - IIಗುರುವಾರII ಇಂದಿನ ಬೈಬಲ್ ವಾಚನಗಳುIIನಿನ್ನ ವಿಶ್ವಾಸ ನಿನ್ನನ್ನು ಉದ್ಧಾರ ಮಾಡಿದೆ; ಸಮಾಧಾನದಿಂದ ಹೋಗು

 ಮೊದಲನೇ ವಾಚನ: 1 ಕೊರಿಂಥಿಯರಿಗೆ 15:1-11


ಪ್ರಿಯ ಸಹೋದರರೇ, ನಾನು ನಿಮಗೆ ಬೋಧಿಸಿದ ಶುಭಸಂದೇಶವನ್ನು ನೆನಪಿಗೆ ತಂದುಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿದ್ದೀರಿ. ಅದರಲ್ಲಿ ನೆಲೆಯಾಗಿ ನಿಂತಿದ್ದೀರಿ.  ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಢವಾಗಿ ವಿಶ್ವಾಸಿಸಿದರೆ ನೀವು ಜೀವೋದ್ಧಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು. ನಾನು ಪಡೆದುಕೊಂಡದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಾಗ ಮಾಡಿದರು.  ಅವರನ್ನು ಭೂಸ್ಥಾಪನೆ ಮಾಡಲಾಯಿತು. ಅದೇ ಗ್ರಂಥದ ಪ್ರಕಾರ ಮೂರನೆಯ ದಿನ ಅವರು ಪುನರುತ್ಥಾನ ಹೊಂದಿದರು.  ಅನಂತರ ಕೇಫನಿಗೂ ಹನ್ನೆರಡು ಮಂದಿಗೂ ಕಾಣಿಸಿಕೊಂಡರು.  ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚಿನ ಮಂದಿ ಸಹೋದರರಿಗೆ ಪ್ರತ್ಯಕ್ಷರಾದರು. ಅವರಲ್ಲಿ ಕೆಲವರು ಸತ್ತುಹೋಗಿದ್ದರೂ ಬಹುಮಂದಿ ಇಂದಿಗೂ ಬದುಕಿದ್ದಾರೆ.  ಅದಾದ ಮೇಲೆ ಯಕೋಬನಿಗೂ ಅನಂತರ ಪ್ರೇಷಿತರೆಲ್ಲರಿಗೂ ಕಾಣಿಸಿಕೊಂಡರು. ಕಟ್ಟಕಡೆಗೆ ದಿನತುಂಬುವ ಮೊದಲೇ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡರು. ನಾನಾದರೋ ಪ್ರೇಷಿತರಲ್ಲಿ ಕನಿಷ್ಠನು, ಪ್ರೇಷಿತನೆಂಬ ಹೆಸರಿಗೂ ಅಪಾತ್ರನು. ಏಕೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು.  ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.  ನಾನಾದರೇನು, ಅವರಾದರೇನು? ನಾವು ಸಾರುವ ಸಂದೇಶ ಒಂದೇ ಅದನ್ನು ನೀವು ನಂಬಿದ್ದೀರಿ.

ಕೀರ್ತನೆ: 118:1-2, 16-17, 28

ಶ್ಲೋಕ: ಸಲ್ಲಿಸಿ ಪ್ರಭುವಿಗೆ ಧನ್ಯವಾದ, ಆತ ಒಳ್ಳೆಯವ 

1.  ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ|
ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ||
ಸಾರಲಿ ಇಸ್ರಯೇಲಿನ ಜನತೆ|
ಆತನ ಪ್ರೀತಿ ಶಾಶ್ವತ ಎಂದೆ||
ಶ್ಲೋಕ

2.  ಪರಾಕ್ರಮ, ಪ್ರದರ್ಶನ ಪ್ರಭುವಿನ ಬಲಗೈಯಿಂದ|
ವಿಜಯ ಸಾಧನ ಪ್ರಭುವಿನ ಬಲಗೈಯಿಂದ||
ಸಾಯೆನು, ಜೀವದಿಂದಿರುವೆನು ನಾನು|
ಪ್ರಭುವಿನ ಕಾರ್ಯಗಳನು ಸಾರುವೆನು||
ಶ್ಲೋಕ

3.  ಪ್ರಭುವೇ ದೇವನು, ನಮ್ಮ ಮೇಲೆ|
ಜ್ಯೋತಿಯನು ಬೆಳಗಿದವನು||
ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ||
ಸದುತ್ತರ ಪಾಲಿಸಿದ ಪ್ರಭೂ,  ನಿನಗೆ ವಂದನೆ|
ಉದ್ಧಾರಮಾಡಿದೆ, ನಿನಗೆ ಕೃತಜ್ಞತಾವಂದನೆ||
ಶ್ಲೋಕ

ಘೋಷಣೆ
(ಮತ್ತಾಯ 11: 25)
ಅಲ್ಲೆಲೂಯ, ಅಲ್ಲೆಲೂಯ.
ಪಿತನೇ, ಭೂಸ್ವರ್ಗಗಳ  ಒಡೆಯನೇ, ಈ ವಿಷಯಗಳನ್ನು ಮಕ್ಕಳಂತವರಿಗೆ ನೀವು ಶ್ರುತಪಡಿಸಿದ್ದೀರಿ| ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ||
ಅಲ್ಲೆಲೂಯ.

ಶುಭಸಂದೇಶ: ಲೂಕ 7:36-50

ಒಬ್ಬ ಫರಿಸಾಯನು ಯೇಸುಸ್ವಾಮಿಯನ್ನು ಊಟಕ್ಕೆ ಆಹ್ವಾನಿಸಿದನು. ಯೇಸು ಅವನ ಮನೆಗೆ ಹೋಗಿ ಊಟಕ್ಕೆ ಕುಳಿತರು.  ಅದೇ ಊರಿನಲ್ಲಿ ಪತಿತೆಯೊಬ್ಬಳು ಇದ್ದಳು. ಆಕೆ, ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕುಳಿತಿದ್ದಾರೆಂದು ಕೇಳಿ ಒಂದು ಅಮೃತಶಿಲೆಯ ಭರಣಿ ತುಂಬ ಸುಗಂಧ ತೈಲವನ್ನು ತೆಗೆದುಕೊಂಡು ಅಲ್ಲಿಗೆ ಬಂದಳು.  ಅವಳು ಯೇಸುವಿನ ಹಿಂಬದಿಯಲ್ಲಿ ಅಳುತ್ತಾನಿಂತು, ತನ್ನ ಕಂಬನಿಯಿಂದ ಅವರ ಪಾದಗಳನ್ನು ತೊಳೆದು ತಲೆಕೂದಲಿನಿಂದ ಒರಸಿ, ಆ ಪಾದಗಳಿಗೆ ಮುತ್ತಿಟ್ಟು, ಸುಗಂಧ ತೈಲವನ್ನುಹಚ್ಚಿದಳು.  ಯೇಸುವನ್ನು ಆಹ್ವಾನಿಸಿದ ಫರಿಸಾಯನು ಇದನ್ನು ನೋಡಿ, ‘ಇವನು ನಿಜವಾಗಿಯೂ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿರುವ ಇವಳು ಯಾರು, ಎಂಥಾ ಪತಿತಳು, ಎಂದು ತಿಳಿದುಕೊಳ್ಳುತ್ತಿದ್ದನು’ ಎಂದು ತನ್ನೊಳಗೇ ಅಂದುಕೊಂಡನು.  ಅದಕ್ಕೆ ಯೇಸು, “ಸಿಮೋನ್, ನಾನು ನಿನಗೆ ಹೇಳಬೇಕಾದ ವಿಷಯ ಒಂದಿದೆ,” ಎಂದರು. ಸಿಮೋನನು, “ಅದೇನು ಹೇಳಿ ಗುರುವೇ,” ಎಂದನು.  ಆಗ ಯೇಸು, “ಒಬ್ಬ ಸಾಲಿಗನಿಗೆ ಇಬ್ಬರು ಸಾಲಗಾರರಿದ್ದರು. ಒಬ್ಬನು ಐನೂರು, ಇನ್ನೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ಅವನಿಗೆ ಸಾಲ ಕೊಡಬೇಕಾಗಿತ್ತು.  ಆ ಇಬ್ಬರಿಗೂ ಸಾಲ ತೀರಿಸಲು ಸಾಧ್ಯವಾಗಲಿಲ್ಲ. ಸಾಲಿಗನು ಇಬ್ಬರ ಸಾಲವನ್ನು ಮನ್ನಾ ಮಾಡಿದನು. ಈಗ ಹೇಳು, ಈ ಇಬ್ಬರಲ್ಲಿ “ಯಾರಿಗೆ ಆ ಸಾಲಿಗನ ಮೇಲೆ ಹೆಚ್ಚು ಪ್ರೀತಿ?” ಎಂದು ಕೇಳಿದರು.  ಅದಕ್ಕೆ ಸಿಮೋನನು, “ಯಾರು ಹೆಚ್ಚು ಸಾಲದಿಂದ ಬಿಡುಗಡೆ ಹೊಂದಿದ್ದಾನೋ ಅವನೇ ಎಂದು ತೋರುತ್ತದೆ,” ಎಂದನು. “ಸರಿಯಾಗಿ ಹೇಳಿದೆ,” ಎಂದರು ಯೇಸು.  ಅನಂತರ ಆ ಮಹಿಳೆಯ ಕಡೆ ತಿರುಗಿ ಸಿಮೋನನಿಗೆ, “ಈಕೆಯನ್ನು ನೋಡಿದೆಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಈಕೆಯಾದರೋ ನನ್ನ ಪಾದಗಳನ್ನು ತನ್ನ ಕಣ್ಣೀರಿನಿಂದ ತೊಳೆದು ತಲೆಗೂದಲಿನಿಂದ ಒರಸಿರುವಳು.  ನೀನು ನನಗೆ ಮುತ್ತಿಟ್ಟು ಸ್ವಾಗತಿಸಲಿಲ್ಲ; ಆದರೆ ಈಕೆ ಒಳಗೆ ಬಂದಾಗಿನಿಂದ ನನ್ನ ಪಾದಗಳಿಗೆ ಮುತ್ತಿಡುವುದನ್ನು ನಿಲ್ಲಿಸಿಲ್ಲ;  ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಈಕೆಯೋ ನನ್ನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿರುವಳು.  ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಈಕೆ ಮಾಡಿದ ಪಾಪಗಳು ಅಪಾರವಾದರೂ ಅವನ್ನು ಕ್ಷಮಿಸಲಾಗಿವೆ; ಇದಕ್ಕೆ ಈಕೆ ತೋರಿಸಿರುವ ಅಧಿಕವಾದ ಪ್ರೀತಿಯೇ ಸಾಕ್ಷಿ. ಕಡಿಮೆ ಕ್ಷಮೆ ಪಡೆದವನು ಕಡಿಮೆ ಪ್ರೀತಿ ತೋರಿಸುತ್ತಾನೆ,” ಎಂದರು.  ಅನಂತರ ಯೇಸು ಆ ಮಹಿಳೆಗೆ: “ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.  ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರು ಇದನ್ನು ಕೇಳಿ, “ಪಾಪಗಳನ್ನು ಕೂಡ ಕ್ಷಮಿಸುವ ಈತ ಯಾರು?” ಎಂದು ತಮ್ಮತಮ್ಮಲ್ಲೇ ಹೇಳಿಕೊಂಡರು.  ಯೇಸು ಆಕೆಗೆ, “ನಿನ್ನ ವಿಶ್ವಾಸ ನಿನ್ನನ್ನು ಉದ್ಧಾರಮಾಡಿದೆ; ಸಮಾಧಾನದಿಂದ ಹೋಗು,” ಎಂದರು.

16.09.2026 - IIಬುಧವಾರII ಇಂದಿನ ಬೈಬಲ್ ವಾಚನಗಳುIIದೈವಜ್ಞಾನವೇ ನಿಜವಾದ ಜ್ಞಾನವೆಂದು ಅದನ್ನು ಅಂಗೀಕರಿಸುವ ಎಲ್ಲರೂ ಸಮರ್ಥಿಸುತ್ತಾರೆ

 ಮೊದಲನೇ ವಾಚನ: 1 ಕೊರಿ0ಥಿಯರಿಗೆ: 12:31--13:13

ಶ್ರೇಷ್ಠವಾದ ವರಗಳನ್ನು ನೀವು ಶ್ರದ್ಧಾಪೂರ್ವಕವಾಗಿ ಅಪೇಕ್ಷಿಸಿರಿ. ನಾನು ನಿಮಗೆ ಇನ್ನೂ ಸರ್ವೋತ್ತಮವಾದ ಮಾರ್ಗವನ್ನು ತೋರಿಸುತ್ತೇನೆ: ಸುರನರರ ನುಡಿಗಳ ನಾನಾಡಬಲ್ಲೆ ನಾದರೂ ಪರಮ ಪ್ರೀತಿಯೊಂದೆನಗಿಲ್ಲದಿರಲು ನಾ ಕೇವಲ ಗಣಗಣಿಸುವ ಘಂಟೆ, ಝಣಝಣಿಸುವ ಜಾಗಟೆ. ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ. ನನಗಿರುವುದೆಲ್ಲವನು ನಾ ದಾನಮಾಡೆ ದೇಹವನೆ ಸಜೀವ ದಹಿಸಲು ನೀಡೆ ನಾನಾಗಿರೆ ಪರಮ ಪ್ರೀತಿ ವಿಹೀನ ಏನದು ಜೀವನ, ನನಗೇನದು ಪ್ರಯೋಜನ? ಸಹನೆ ಸೈರಣೆ, ದಯೆದಾಕ್ಷಿಣ್ಯ ಪ್ರೀತಿಯಲ್ಲಿವೆ. ಎಡೆಯಿಲ್ಲ ಅದರಲಿ ಗರ್ವಕೆ, ಮರ್ಮಕೆ, ಮೆರೆತಕೆ, ಮತ್ಸರಕೆ, ಸಿಡುಕಿಗೆ, ಸೊಕ್ಕಿಗೆ, ಸ್ವಾರ್ಥಕೆ, ಸೇಡುಗಳೆಣಿಕೆಗೆ. ನಲಿಯದು ಪ್ರೀತಿ ಅನೀತಿಯಲಿ ನಲಿಯದಿರದದು ಸತ್ಯದ ಜಯದಲಿ. ನಂಬುವುದೆಲ್ಲವನು, ನಿರೀಕ್ಷಿಸುವುದೆಲ್ಲವನು, ಸಹಿಸಿಕೊಳ್ಳುವುದು ಸಮಸ್ತವನು ಪ್ರೀತಿಯದೆಂದೂ ಅರಿಯದು ಸೋಲನು. ಅಳಿದುಹೋಗುವುವು ಭವಿಷ್ಯವಾಣಿ ಗತಿಸಿಹೋಗುವುದು ಬಹುಭಾಷಾ ಶಕ್ತಿ ಹೋಗುವುವು ನಶಿಸಿ ಜ್ಞಾನ, ಬುದ್ಧಿ. ಆದರೆ ಅಮರವಾದುದು ಪರಮ ಪ್ರೀತಿ. ಅಪೂರ್ವವಾದುದು ನಮ್ಮಾ ಅರಿವೆಲ್ಲ ಪೂರ್ಣವಾದುದಲ್ಲ ಪ್ರವಾದನವದೆಲ್ಲ; ಪರಿಪೂರ್ಣತೆ ಪ್ರಾಪ್ತವಾಗಲು ಇಲ್ಲವಾಗುವುದು ಅಪೂರ್ಣತೆಯೆಲ್ಲ. ಬಾಲಕ ನಾನಾಗಿರೆ ಆಡಿದೆ, ಮಾತಾಡಿದೆ, ಚಿಂತಿಸಿದೆ, ಸುಖದುಃಖಗಳ ಸವಿದೆ ಬಾಲಕನಂತೆ. ಬಲಿತು ಬೆಳೆದು ಮನುಜನಾದುದೆ ಬಾಲಿಶವಾದುದೆಲ್ಲವನು ಬದಿಗೊತ್ತಿದೆ. ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ ನಿಲ್ಲುವುವು ನಂಬಿಕೆ, ನಿರೀಕ್ಷೆ, ಪ್ರೀತಿ ನೆಲೆಯಾಗಿ; ಈ ಮೂರರಲಿ ಪ್ರೀತಿಯೇ ಪರಮೋನ್ನತ ವೆಂಬುದ ನೀನರಿ.

ಕೀರ್ತನೆ: 33:2-3, 4-5, 12, 22

ಶ್ಲೋಕ: ಸ್ವಜನರಾಗಿ ಪ್ರಭು ಆಯ್ದುಕೊಂಡ ಜನತೆ ಧನ್ಯ
1.  ಪ್ರಭುವನು ಕೊಂಡಾಡಿ ಕಿನ್ನರಿಯನು ನುಡಿಸುತ|
ಕೀರ್ತಿಸಿ ದಶ ತಂತಿ ವೀಣೆಯನು ಬಾರಿಸುತ||
ನೂತನ ಕೀರ್ತನೆಯನು ಆತನಿಗೆ ಹಾಡಿರಿ|
ಇಂಪಾಗಿ ಬಾರಿಸಿ, ಸೊಂಪಾಗಿ ಭಜಿಸಿರಿ||
ಶ್ಲೋಕ

2.  ಸತ್ಯವಾದುದು ಆತನ ಪವಿತ್ರ ವಾಕ್ಯ|
ಸ್ತುತ್ಯವಾದುದು ಆತನ ಪುನೀತ ಕಾರ್ಯ||
ಸತ್ಯಸಂಧನು, ನ್ಯಾಯಪ್ರಿಯನು ಆತನು| 
ಅಚಲ ಪ್ರೀತಿಯಿಂದ ಪ್ರಭು ಜಗವನು ತುಂಬಿಹನು||
ಶ್ಲೋಕ

3.  ಪ್ರಭುವನು ದೇವರಾಗಿ ಪಡೆದ ಜನಾಂಗ ಧನ್ಯ|
ಪ್ರಭುವನು ಕೊಂಡಾಡಿ ಕಿನ್ನರಿಯನು ನುಡಿಸುತ||
ಕೀರ್ತಿಸಿ ದಶ ತಂತಿ ವೀಣೆಯನು ಬಾರಿಸುತ|
ನೂತನ ಕೀರ್ತನೆಯನು ಆತನಿಗೆ ಹಾಡಿರಿ|
ಇಂಪಾಗಿ ಬಾರಿಸಿ, ಸೊಂಪಾಗಿ ಭಜಿಸಿರಿ||
ಶ್ಲೋಕ

4.  ಸತ್ಯವಾದುದು ಆತನ ಪವಿತ್ರ ವಾಕ್ಯ|
ಸ್ತುತ್ಯವಾದುದು ಆತನ ಪುನೀತ ಕಾರ್ಯ||
ಸತ್ಯಸಂಧನು, ನ್ಯಾಯಪ್ರಿಯನು ಆತನು|
ಅಚಲ ಪ್ರೀತಿಯಿಂದ ಜಗವನು ತುಂಬಿಹನು||
ಶ್ಲೋಕ

5.  ಪ್ರಭುವನು ದೇವರಾಗಿ ಪಡೆದ ಜನಾಂಗ ಧನ್ಯ|
ಸ್ವಜನರಾಗಿ ಆತನಾಯ್ದುಕೊಂಡ ಜನತೆ ಧನ್ಯ||
ನಮ್ಮ ಮೇಲಿರಲಿ ಪ್ರಭೂ, ನಿನ್ನಚಲ ಪ್ರೀತಿ, ಕಾದಿಹೆವು ಇದೋ ನಿನ್ನ ನಂಬಿ ಭರವಸದಿ||
ಶ್ಲೋಕ

ಘೋಷಣೆ
(ಮತ್ತಾಯ 4: 4)
ಅಲ್ಲೆಲೂಯ, ಅಲ್ಲೆಲೂಯ.
ಮಾನವನು  ಜೀವಿಸುವುದು  ಆಹಾರದಿಂದ  ಮಾತ್ರವಲ್ಲ,| ದೇವರಾಡುವ ಪ್ರತಿಯೊಂದು ನುಡಿಯಿಂದ||
ಅಲ್ಲೆಲೂಯ.

ಶುಭಸಂದೇಶ: ಲೂಕ 7:31-35

ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಇವರು ಯಾರನ್ನು ಹೋಲುತ್ತಾರೆ?  ಪೇಟೆಬೀದಿಯಲ್ಲಿ ಕುಳಿತು, ‘ನಾವು ಕೊಳಲನೂದಲು ನೀವು ಕುಣಿದಾಡಲಿಲ್ಲ; ನಾವು ಶೋಕಗೀತೆಗಳ ಹಾಡಲು ನೀವು ಕಣ್ಣೀರಿಡಲಿಲ್ಲ.’ ಎಂದು ಒಬ್ಬರಿಗೊಬ್ಬರು ಕೂಗಾಡುವ ಮಕ್ಕಳನ್ನು ಹೋಲುತ್ತಾರೆ.  ಸ್ನಾನಿಕ ಯೊವಾನ್ನನು ಬಂದಾಗ ಅನ್ನ ಆಹಾರವನ್ನು ಸೇವಿಸಲಿಲ್ಲ, ದ್ರಾಕ್ಷಾರಸವನ್ನು ಮುಟ್ಟಲಿಲ್ಲ; ನೀವು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳಿದಿರಿ;  ನರಪುತ್ರನು ಬಂದಾಗ ಅನ್ನ ಪಾನೀಯಗಳನ್ನು ಸೇವಿಸಿದನು; ನೀವು, ‘ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ,’ ಎನ್ನುತ್ತೀರಿ.  ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದನ್ನು ಅಂಗೀಕರಿಸುವ ಎಲ್ಲರೂ ಸಮರ್ಥಿಸುತ್ತಾರೆ,” ಎಂದರು.

15.09.2026 - IIಮಂಗಳವಾರII ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು

 ಮೊದಲನೇ ವಾಚನ: 1 ಕೊರಿಂಥಿಯರಿಗೆ  12:12-14, 27-31


ದೇಹ ಒಂದೇ; ಅಂಗಗಳು ಹಲವು. ಆ ಅಂಗಗಳು ಅನೇಕವಿದ್ದರೂ ಅವು ಸೇರಿ ಒಂದೇ ದೇಹವಾಗುತ್ತದೆ. ಅಂತೆಯೇ ಕ್ರಿಸ್ತಯೇಸು. ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ಪರತಂತ್ರರಾಗಿರಲಿ, ಸ್ವತಂತ್ರರಾಗಿರಲಿ - ನಾವೆಲ್ಲರೂ ಒಂದೇ ದೇಹವಾಗುವಂತೆ ಒಂದೇ ಆತ್ಮದಿಂದ ದೀಕ್ಷಾಸ್ನಾನ ಹೊಂದಿದ್ದೇವೆ. ಒಂದೇ ಆತ್ಮವನ್ನು ನಮ್ಮೆಲ್ಲರಿಗೂ ಪಾನವಾಗಿ ಕೊಡಲಾಗಿದೆ. ದೇಹವು ಏಕ ಅಂಗದಿಂದ ಅಲ್ಲ, ಅನೇಕ ಅಂಗಗಳಿಂದ ಕೂಡಿದೆ. ನೀವೆಲ್ಲರೂ ಕ್ರಿಸ್ತಯೇಸುವಿನ ದೇಹ ಆಗಿದ್ದೀರಿ; ಪ್ರತಿಯೊಬ್ಬನೂ ಈ ದೇಹದ ಅಂಗವಾಗಿದ್ದಾನೆ. ದೇವರು ತಮ್ಮ ಸಭೆಯಲ್ಲಿ, ಮೊದಲನೆಯದಾಗಿ ಪ್ರೇಷಿತರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಪವಾಡಗಳನ್ನು ಎಸಗುವವರನ್ನು, ರೋಗಗಳನ್ನು ಗುಣಪಡಿಸುವವರನ್ನು, ಪರೋಪಕಾರಿಗಳನ್ನು, ಪರಿಪಾಲಕರನ್ನು, ಬಹುಭಾಷಾ ಪಂಡಿತರನ್ನು ನೇಮಿಸಿದ್ದಾರೆ. ಎಲ್ಲರೂ ಪ್ರೇಷಿತರಲ್ಲ, ಎಲ್ಲರೂ ಪ್ರವಾದಿಗಳಲ್ಲ, ಎಲ್ಲರೂ ಬೋಧಕರಲ್ಲ, ಎಲ್ಲರೂ ಪವಾಡಪುರುಷರಲ್ಲ, ಎಲ್ಲರೂ ರೋಗಗಳನ್ನು ಗುಣಪಡಿಸುವವರಲ್ಲ, ಎಲ್ಲರೂ ಪರೋಪಕಾರಿಗಳಲ್ಲ, ಎಲ್ಲರೂ ಪರಿಪಾಲಕರಲ್ಲ, ಎಲ್ಲರೂ ಬಹುಭಾಷಾಪಂಡಿತರಲ್ಲ, ಅಥವಾ ಎಲ್ಲರೂ ಆ ಭಾಷೆಗಳನ್ನು ವಿವರಿಸಿ ಹೇಳುವವರಲ್ಲ. ಶ್ರೇಷ್ಠವಾದ ವರಗಳನ್ನು ನೀವು ಶ್ರದ್ಧಾಪೂರ್ವಕವಾಗಿ ಅಪೇಕ್ಷಿಸಿರಿ. 

ಕೀರ್ತನೆ: 100:1-2, 3, 4, 5

ಶ್ಲೋಕ: ಪ್ರಭುವಿನ ಜನ, ಆತನೇ ಮೇಯಿಸುವ ಕುರಿಗಳು ನಾವು

ಭೊನಿವಾಸಿಗಳೇ, ಜಯಘೋಷಮಾಡಿ ಪ್ರಭುವಿಗೆ|
ಅತಿಸಂತೋಷದಿಂದ ಸೇವೆಮಾಡಿ ಆತನಿಗೆ||
ಹಾಡುತಾ, ಪಾಡುತಾ, ಬನ್ನಿ ಆತನ ಸನ್ನಿಧಿಗೆ||

ಪಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು|
ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು|
ಆತನ ಜನ, ಆತನೇ ಮೇಯಿಸುವ ಕುರಿಗಳು ನಾವು||

ಆತನ ಗೃಹದ್ವಾರವನು ಪ್ರವೇಶಿಸಿ ಧನ್ಯವಾದಗಳೊಂದಿಗೆ|
ಆತನ ನಾಮವನು ಕೊಂಡಾಡಿ ಉಪಕಾರ ಸ್ಮರಣೆಯೊಂದಿಗೆ||

ಹೌದು, ಪ್ರಭುವೆನಿತೋ ಒಳ್ಳೆಯವನು|
ಇರುವುದಾತನ ಪ್ರೀತಿ ಯುಗಯುಗಕು|
ಆತನ ಸತ್ಯತೆ ತಲತಲಾಂತರಕು||

ಅಲ್ಲೆಲೂಯ, ಅಲ್ಲೆಲೂಯ!

ಹೊಗಳಲಿ ಇವರೆಲ್ಲರು ಪ್ರಭುವಿನ ನಾಮವನು, ಕೋಡು ಮೂಡಿಸಿಹನು ಪ್ರಭು ತನ್ನ ಪ್ರಜೆಗೆ,,
ಅಲ್ಲೆಲೂಯ!

ಶುಭಸಂದೇಶ: ಲೂಕ 7:11-17


ಯೇಸುಸ್ವಾಮಿ ನಾಯಿನ್ ಎಂಬ ಊರಿಗೆ ಹೊರಟರು. ಅವರೊಂದಿಗೆ ಶಿಷ್ಯರೂ ಅನೇಕ ಜನರೂ ಹೊರಟರು. ಊರ ಬಾಗಿಲನ್ನು ಸಮೀಪಿಸಿದಾಗ, ಒಂದು ಶವಯಾತ್ರೆಯನ್ನು ಅವರು ಎದುರುಗೊಂಡರು. ಆ ಸತ್ತವನು ತನ್ನ ತಾಯಿಗೆ ಒಬ್ಬನೇ ಮಗ. ಆಕೆಯೋ ವಿಧವೆ. ಜನರ ದೊಡ್ಡ ಗುಂಪೊಂದು ಆಕೆಯೊಡನೆ ಬರುತ್ತಿತ್ತು. ಪ್ರಭು ಯೇಸು ಆಕೆಯನ್ನು ಕಂಡದ್ದೇ ಕನಿಕರಗೊಂಡು, ‘ಅಳಬೇಡ’ ಎಂದು ಹೇಳಿ, ಚಟ್ಟದ ಹತ್ತಿರಕ್ಕೆ ಬಂದು, ಅದನ್ನು ಮುಟ್ಟಿದರು. ಹೊತ್ತುಕೊಂಡು ಹೋಗುತ್ತಿದ್ದವರು ಹಾಗೆಯೇ ನಿಂತರು. ಆಗ ಯೇಸು, “ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು,” ಎಂದರು. ಸತ್ತವನು ಎದ್ದು ಕುಳಿತು ಮಾತನಾಡಲಾರಂಭಿಸಿದನು. ಯೇಸು ಆ ಮಗನನ್ನು ತಾಯಿಗೆ ಒಪ್ಪಿಸಿದರು. ಎಲ್ಲರೂ ಭಯಭ್ರಾಂತರಾದರು. “ಮಹಾಪ್ರವಾದಿಯೊಬ್ಬನು ನಮ್ಮಲ್ಲೇ ಉದಯಿಸಿದ್ದಾನೆ; ದೇವರು ತಮ್ಮ ಜನರನ್ನು ರಕ್ಷಿಸಲು ಬಂದಿದ್ದಾರೆ,” ಎಂದು ದೇವರನ್ನು ಕೊಂಡಾಡಿದರು. ಯೇಸುವಿನ ಈ ಸಮಾಚಾರ ಜುದೇಯ ನಾಡಿನಲ್ಲೆಲ್ಲಾ ಹಾಗೂ ಸುತ್ತಮುತ್ತಲಿನ ಪ್ರಾಂತ್ಯದಲ್ಲೆಲ್ಲಾ ಹರಡಿತು. 

ಕ್ಷಮೆಯ ಕುರಿತು ಬೈಬಲ್ ವಾಕ್ಯಗಳು



ಕೋಪವು ನಿಮ್ಮ ಹೃದಯವನ್ನು ನಿಯಂತ್ರಿಸುತ್ತಿರುವಾಗ - ಮತ್ತಾಯ 5:44 

ಆದರೆ ನಾನು ನಿಮಗೆ ಹೇಳುವದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; 
ನಿಮ್ಮನ್ನು ಹಿಂಸೆ ಪಡಿಸುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ

************************


ದೇವರ ಕ್ಷಮೆ ಅಗತ್ಯವಿರುವಾಗ - 1 ಯೊವಾನ್ನ 1:9 

ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ 
ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷವಿುಸಿಬಿಟ್ಟು 
ಸಕಲ ಅನೀತಿಯನ್ನು ಪರಿಹರಿಸಿ ನಮ್ಮನ್ನು ಶುದ್ಧಿಮಾಡುವನು

************************


 ಮನಸ್ಸಿನಲ್ಲಿ ಶಾಂತಿಯನ್ನು ಬಯಸಿದಾಗ - ರೋಮನರಿಗೆ 12:18 

ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ. 

************************


 ಪದೇ ಪದೇ ಕ್ಷಮಿಸುವುದು ಕಷ್ಟವಾಗುತ್ತಿರುವಾಗ - ಮತ್ತಾಯ 18:21–22

ಆಗ ಪೇತ್ರನು ಆತನ ಬಳಿಗೆ ಬಂದು - ಸ್ವಾಮೀ, ನನ್ನ ಸಹೋದರನು ನನಗೆ ತಪ್ಪುಮಾಡುತ್ತಾ ಬಂದರೆ ನಾನು ಎಷ್ಟು ಸಾರಿ ಅವನಿಗೆ ಕ್ಷವಿುಸಬೇಕು? ಏಳು ಸಾರಿಯೋ ಎಂದು ಕೇಳಲು ಯೇಸು ಅವನಿಗೆ - ಏಳು ಸಾರಿ ಎಂದಲ್ಲ, ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ

************************

17.10.2026 - IIಶನಿವಾರIIಪವಿತ್ರಾತ್ಮ ಅವರನ್ನು ದೂಷಿಸುವವನಿಗೆ ಕ್ಷಮೆಯೇ ದೊರಕದು.

   ಮೊದಲನೇ ವಾಚನ: ಎಫೆಸಿಯರಿಗೆ 1:15-23  ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ವಿಶ್ವಾಸ ಹಾಗೂ ದೇವಜನರೆಲ್ಲರ ಮೇಲೆ ನಿಮಗಿರುವ ಪ್ರೀತಿಯನ್ನು ಕುರಿತು ಕೇಳಿದ್ದೇನೆ. ಅಂದಿ...