04.09.2026 - ಶುಕ್ರವಾರII ಇಂದಿನ ಬೈಬಲ್ ವಾಚನIIಹಳೆಯ ಅಂಗಿಗೆ ತೇಪೆ ಹಾಕಲು ಹೊಸ ಅಂಗಿಯಿಂದ ತುಂಡನ್ನು ಯಾರೂ ಹರಿಯುವುದಿಲ್ಲ

ಮೊದಲನೇ ವಾಚನ: 1 ಕೊರಿಂಥಿಯರಿಗೆ 4:1-5


ಸಹೋದರರೇ, ನಾವು ಕ್ರಿಸ್ತಯೇಸುವಿನ ದಾಸರೆಂದೂ ದೇವರ ಸತ್ಯಾರ್ಥಗಳ ನಂಬಿಗಸ್ಥ ನಿರ್ವಾಹಕರೆಂದೂ ಜನರು ನಮ್ಮನ್ನು ಪರಿಗಣಿಸಲಿ. ನಿರ್ವಾಹಕರು ಪ್ರಾಮಾಣಿಕರಾಗಿರಬೇಕಾದುದು ಅತ್ಯವಶ್ಯ. ನನ್ನ ವಿಷಯದಲ್ಲಿ ಹೇಳುವುದಾದರೆ, ನಿಮ್ಮಿಂದಾಗಲಿ, ಮಾನವ ನಿಯಮಿತ ನ್ಯಾಯಾಲಯದಿಂದಾಗಲಿ ನನ್ನ ವಿಚಾರಣೆಯಾಗುವುದರ ಬಗ್ಗೆ ನನಗೆ ಕಿಂಚಿತ್ತೂ ಚಿಂತೆಯಿಲ್ಲ. ನನಗೆ ನಾನೇ ನ್ಯಾಯತೀರ್ಪು ಮಾಡಿಕೊಳ್ಳುವುದೂ ಇಲ್ಲ. ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಾಕ್ಷಿಗೆ ತೋರುವುದಿಲ್ಲ. ಆದರೂ ನಾನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯನಿರ್ಣಯ ಮಾಡುವವರು ಪ್ರಭುವೇ. ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.

ಕೀರ್ತನೆ: 37:3-4, 5-6, 27-28, 39-40

ಶ್ಲೋಕ: ಸಜ್ಜನರ ಜೀವೋದ್ಧಾರ ಪ್ರಭುವಿನಿಂದ 

1.  ಒಳಿತನು ಮಾಡು ಪ್ರಭುವಿನಲಿ ಭರವಸೆಯಿಟ್ಟು|
ಸುರಕ್ಷಿತವಾಗಿ ಬಾಳು ಸಿರಿನಾಡಿನಲ್ಲಿದ್ದು||
ಪ್ರಭುವಿನಿಂದಲೇ ಬಯಸು ನಿನ್ನಾಂದವನು|
ನೆರವೇರಿಸುವನಾತ ನಿನ್ನ ಮನದಾಸೆಯನು||
ಶ್ಲೋಕ

2.  ಪ್ರಭುವಿಗೆ ಬಿಡು ಜೀವನಯಾತ್ರಾ ಚಿಂತೆಯನು|
ಭರವಸೆಯಿಂದಿರು, ಆತನದನು ಸಾಗಿಸುವನು||
ಬೆಳಗಿಸುವನು ನಿನ್ನ ಸತ್ಯಸಂಧತೆಯನು ಸೂರ್ಯೋದಯದಂತೆ|
ಪ್ರಕಟಿಸುವನು ನಿನ್ನ ನ್ಯಾಯನಿಷ್ಠೆಯನು ನಡು ಹಗಲಿನಂತೆ||
ಶ್ಲೋಕ

3.  ಕೆಟ್ಟದನು ಬಿಡು ಒಳ್ಳೆಯದನ್ನು ಮಾಡು|
ಸಿರಿನಾಡಿನಲಿ ಚಿರಕಾಲ ಬಾಳು|
ಪ್ರಭುವು ನ್ಯಾಯಪ್ರಿಯನು, ಭಕ್ತ ಜನರ ಪರಿಪಾಲಕನು||
ಶ್ಲೋಕ

4.  ಸಜ್ಜನರ ಜೀವೋದ್ಧಾರ ಪ್ರಭುವಿನಿಂದ|
ಆಪತ್ಕಾಲದಲ್ಲಿ ಆಶ್ರಯ ಆತನಿಂದ||
ತನ್ನಾಶ್ರಿತರನು ಪ್ರಭು ಕೈನೀಡಿ ಕಾಪಾಡುವನು|
ದುಷ್ಟರ ವಶದಿಂದವರನು ತಪ್ಪಿಸಿ ಉದ್ಧರಿಸುವನು||
ಶ್ಲೋಕ

ಘೋಷಣೆ
(ಕೀರ್ತನೆ 111: 7,8)

ಅಲ್ಲೆಲೂಯ, ಅಲ್ಲೆಲೂಯ.
ಸುಸ್ಥಿರವಾದವು  ಪ್ರಭುವಿನ  ನಿಯಮ  ನಿಬಂಧನೆಗಳು | ಯುಗಯುಗಾಂತರಕು  ದೃಢವಾಗಿರುವುವು ||
ಅಲ್ಲೆಲೂಯ.

ಶುಭಸಂದೇಶ: ಲೂಕ 5:33-39


ಕೆಲವರು ಯೇಸುಸ್ವಾಮಿ ಬಳಿಗೆ ಬಂದು, “ಯೊವಾನ್ನನ ಶಿಷ್ಯರು ಪದೇಪದೇ ಉಪವಾಸವಿದ್ದು ಪ್ರಾರ್ಥನೆ ಮಾಡುತ್ತಾರೆ. ಅದರಂತೆಯೇ, ಫರಿಸಾಯರ ಶಿಷ್ಯರೂ ಮಾಡುತ್ತಾರೆ. ನಿನ್ನ ಶಿಷ್ಯರಾದರೋ ತಿಂದು ಕುಡಿಯುವುದರಲ್ಲಿಯೇ ಇದ್ದಾರೆ,” ಎಂದು ಕೆಲವರು ಮೂದಲಿಸಿದರು.  ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿರುವಾಗ ಮದುವೆಯ ಅತಿಥಿಗಳನ್ನು ಉಪವಾಸವಿರಿಸಲಾದೀತೆ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು. ಆ ದಿನಗಳು ಬಂದಾಗ ಅವರು ಉಪವಾಸಮಾಡುವರು,” ಎಂದು ಉತ್ತರಕೊಟ್ಟರು. ಮತ್ತೆ ಅವರಿಗೆ ಯೇಸು ಈ ಸಾಮತಿಯನ್ನು ಹೇಳಿದರು: “ಹಳೆಯ ಅಂಗಿಗೆ ತೇಪೆ ಹಾಕಲು ಹೊಸ ಅಂಗಿಯಿಂದ ತುಂಡನ್ನು ಯಾರೂ ಹರಿಯುವುದಿಲ್ಲ. ಹಾಗೆ ಮಾಡಿದ್ದೇ ಆದರೆ ಹೊಸದೂ ಹರುಕಲಾಗಿ, ಹಳೆಯದೂ ಹೊಸ ತೇಪೆಗೆ ಹೊಂದಿಕೆಯಾಗದೆ ಹೋಗುತ್ತದೆ.  ಅಂತೆಯೇ, ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ಯಾರೂ ತುಂಬಿಡುವುದಿಲ್ಲ. ತುಂಬಿ ಇಟ್ಟರೆ, ಹೊಸ ಮದ್ಯವು ಬುದ್ದಲಿಗಳನ್ನು ಬಿರಿಯುತ್ತದೆ; ಮದ್ಯ ಚೆಲ್ಲಿಹೋಗುತ್ತದೆ; ಬುದ್ದಲಿಗಳೂ ಹಾಳಾಗುತ್ತವೆ.  ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು.  ಹಳೆ ಮದ್ಯ ಕುಡಿದವನಿಗೆ ಹೊಸದು ರುಚಿಸುವುದಿಲ್ಲ. ಅವನು ಹಳೆಯದೇ ಶ್ರೇಷ್ಠವೆನ್ನುತ್ತಾನೆ,” ಎಂದರು.

No comments:

Post a Comment

04.09.2026 - ಶುಕ್ರವಾರII ಇಂದಿನ ಬೈಬಲ್ ವಾಚನIIಹಳೆಯ ಅಂಗಿಗೆ ತೇಪೆ ಹಾಕಲು ಹೊಸ ಅಂಗಿಯಿಂದ ತುಂಡನ್ನು ಯಾರೂ ಹರಿಯುವುದಿಲ್ಲ

ಮೊದಲನೇ ವಾಚನ: 1 ಕೊರಿಂಥಿಯರಿಗೆ 4:1-5 ಸಹೋದರರೇ, ನಾವು ಕ್ರಿಸ್ತಯೇಸುವಿನ ದಾಸರೆಂದೂ ದೇವರ ಸತ್ಯಾರ್ಥಗಳ ನಂಬಿಗಸ್ಥ ನಿರ್ವಾಹಕರೆಂದೂ ಜನರು ನಮ್ಮನ್ನು ಪರಿಗಣಿಸಲಿ. ನಿರ್...