Monday, June 8, 2026

09.06.2026 - ಈ ಧರೆಗೆ ನೀವೇ ಉಪ್ಪು; ಉಪ್ಪೇ ಸಪ್ಪೆಯಾಗಿಬಿಟ್ಟರೆ ಅದಕ್ಕೆ ಇನ್ನಾವುದರಿಂದ ಪುನಃ ರುಚಿಬಂದೀತು

 ಮೊದಲನೇ ವಾಚನ: 1 ಅರಸುಗಳು  17:7-16


ಕೆಲವು ದಿವಸಗಳಾದ ನಂತರ ನಾಡಿನಲ್ಲಿ ಮಳೆಯಿಲ್ಲದ್ದರಿಂದ ಹಳ್ಳವು ಬತ್ತಿ ಹೋಯಿತು. ಆಗ ಸರ್ವೇಶ್ವರ ಅವನಿಗೆ: “ನೀನು ಇಲ್ಲಿಂದ ಸಿದೋನ್ಯರ ಸರೆಪ್ತಾ ಊರಿಗೆ ಹೊರಟುಹೋಗಿ ಅಲ್ಲಿ ವಾಸಿಸು. ನಿನ್ನನ್ನು ಪೋಷಿಸಬೇಕೆಂದು ಅಲ್ಲಿನ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ,” ಎಂದರು. ಅವನು ಅಲ್ಲಿಂದ ಹೊರಟು ಸರೆಪ್ತಾದ ಊರು ಬಾಗಿಲಿನ ಸಮೀಪಕ್ಕೆ ಬಂದನು. ಸೌದೆ ಕೂಡಿಸುತ್ತಿದ್ದ ಒಬ್ಬ ವಿಧವೆಯನ್ನು ಕಂಡು ಆಕೆಯನ್ನು ಕರೆದು, “ದಯವಿಟ್ಟು ಕುಡಿಯುವುದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ,” ಎಂದು ಹೇಳಿದನು. ಆಕೆ ಹೋಗುತ್ತಿರುವಾಗ ಮತ್ತೆ ಆಕೆಯನ್ನು ಕರೆದು, “ನೀನು ಬರುವಾಗ ನನಗೆ ಒಂದು ತುಂಡು ರೊಟ್ಟಿಯನ್ನು ಸಹ ತೆಗೆದುಕೊಂಡು ಬಾ,” ಎಂದನು. ಆಕೆ, “ನಿನ್ನ ದೇವರಾದ ಸರ್ವೇಶ್ವರನಾಣೆ, ನನ್ನ ಹತ್ತಿರ ರೊಟ್ಟಿಯಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆ, ಇವುಗಳ ಹೊರತು ಬೇರೇನೂ ಇಲ್ಲ. ಈಗ ಸೌದೆ ಆಯ್ದುಕೊಂಡು ಹೋಗಿ ನನಗೂ ನನ್ನ ಮಗನಿಗೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ,” ಎಂದು ಉತ್ತರ ಕೊಟ್ಟಳು. ಆಗ ಎಲೀಯನು, “ಹೆದರಬೇಡ, ನೀನು ಹೇಳಿದಂತೆ ಮಾಡು; ಆದರೆ ಮೊದಲು ಅದರಿಂದ ನನಗೆ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ; ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ. ಇಸ್ರಯೇಲ್ ದೇವರಾದ ಸರ್ವೇಶ್ವರ ನಿನಗೆ, “ನಾನು ನಾಡಿಗೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಕೆಯಲ್ಲಿರುವ ಹಿಟ್ಟು ತೀರುವುದಿಲ್ಲ, ಕುಡಿಕೆಯಲ್ಲಿರುವ ಎಣ್ಣೆ ಮುಗಿದುಹೋಗುವುದಿಲ್ಲ,” ಎಂದು ಹೇಳುತ್ತಾರೆ ಎಂದನು. ಆಕೆ ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ ಆಕೆಯ ಮನೆಯವರೂ ಎಲೀಯನೂ ಅದನ್ನು ಅನೇಕ ದಿವಸಗಳವರೆಗೆ ಊಟಮಾಡಿದರು. ಸರ್ವೇಶ್ವರ ಎಲೀಯನ ಮುಖಾಂತರ ಹೇಳಿದಂತೆ ಮಡಕೆಯಲ್ಲಿದ್ದ ಹಿಟ್ಟು ತೀರಲಿಲ್ಲ; ಕುಡಿಕೆಯಲ್ಲಿದ್ದ ಎಣ್ಣೆ ಮುಗಿದು ಹೋಗಲಿಲ್ಲ

ಕೀರ್ತನೆ: 4:2-3, 4-5, 7-8


ಶ್ಲೋಕ: ಬೆಳಗಿಸಲಿ ನಮ್ಮನು, ಓ ಪ್ರಭೂ, ನಿನ್ನ ಮೊಗದ ಘನತೆ


ಎಲೆ ಮಾನವ, ಎಲ್ಲಿಯತನಕ ಕೆಡಿಸುವೆ ಎನ್ನ ಘನತೆಯ? I
ಅದೆಷ್ಟು ಕಾಲ ಹುರುಳಿಲ್ಲದನು ಬಯಸಿ ಅರಸುವೆ ಹುಸಿಯ? II
ಭಕ್ತನನು ಪ್ರಭು ಪ್ರತ್ಯೇಕಿಸಿಕೊಂಡನೆಂದು ತಿಳಿದುಕೊ I
ನಾ ಮೊರೆಯಿಟ್ಟಾಗ ಆತ ಕಿವಿಗೊಡುವನೆಂದು ಅರಿತುಕೊ II

ಕೋಪಗೊಂಡರೂ ದೂರವಿರು ಪಾಪದಿಂದ I
ಶಯನದಲ್ಲಿದ್ದರೂ ಧ್ಯಾನಿಸು ಹೃದಯದಿಂದ II
ಅರ್ಪಿಸಿರಿ ಯೋಗ್ಯ ಬಲಿಗಳನೆ I
ಇಡಿರಿ ಭರವಸೆ ಪ್ರಭುವಿನಲೆ II

ಧಾನ್ಯದ್ರಾಕ್ಷಿಗಳ ಸುಗ್ಗಿಸಂತಸಕ್ಕಿಂತಲು I
ಮಿಗಿಲಾನಂದ ತುಂಬಿಸಿರುವೆ ನೀ ಎನ್ನೆದೆಯೊಳು II
ಮಲಗಿ ನಿದ್ರಿಸುವೆನು ನಾ ನಿಶ್ಚಿಂತನಾಗಿ I
ಪ್ರಭು ನೀ ಕಾಯುವೆ ಎನ್ನ ಸುರಕ್ಷಿತನಾಗಿ II

ಶುಭಸಂದೇಶ: ಮತ್ತಾಯ 5:13-16 



ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ಈ ಧರೆಗೆ ನೀವೇ ಉಪ್ಪು; ಉಪ್ಪೇ ಸಪ್ಪೆಯಾಗಿಬಿಟ್ಟರೆ ಅದಕ್ಕೆ ಇನ್ನಾವುದರಿಂದ ಪುನಃ ರುಚಿಬಂದೀತು? ಇನ್ನು ಅದು ಕೆಲಸಕ್ಕೆ ಬಾರದ ವಸ್ತು. ಜನರು ಅದನ್ನು ಆಚೆ ಬಿಸಾಡುತ್ತಾರೆ. ದಾರಿಗರು ಅದನ್ನು ತುಳಿದುಬಿಡುತ್ತಾರಷ್ಟೆ.” “ಜಗತ್ತಿಗೆ ನೀವೇ ಜ್ಯೋತಿ. ಬೆಟ್ಟದ ಮೇಲಿನ ಪಟ್ಟಣವನ್ನು ಮುಚ್ಚಿಡಲಾಗದು. ಅಂತೆಯೇ ಯಾರೂ ದೀಪವನ್ನು ಹಚ್ಚಿ ಬಟ್ಟಲ ಕೆಳಗೆ ಬಚ್ಚಿಡುವುದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವ ಎಲ್ಲರಿಗೆ ಬೆಳಕನ್ನು ಕೊಡುತ್ತದೆ. ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ."

08.06.2026 - ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು

 ಮೊದಲನೆಯ ವಾಚನ: 1 ಅರಸುಗಳ  17:1-6


ಗಿಲ್ಯಾದಿನ ಪವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, " ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ, "ಎಂದನು. ಸರ್ವೇಶ್ವರಸ್ವಾಮಿ ಎಲೀಯನಿಗೆ, "ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗು; ಜೋರ್ಡನ್ ನದಿಯ ಆಚೆಯಿರುವ ಕೇರಿತ್ ಹಳ್ಳದಲ್ಲಿ ಅಡಗಿಕೋ. ಆ ಹಳ್ಳದ ನೀರು ನಿನಗೆ ಪಾನವಾಗಿರುವುದು; ನಿನಗೆ ಆಹಾರ ತಂದುಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ, "ಎಂದು ಹೇಳಿದರು. ಸರ್ವೇಶ್ವರನ ಅಪ್ಪಣೆಯಂತೆ ಜೋರ್ಡನಿನ ಪೂರ್ವಕ್ಕಿರುವ ಕೇರಿತ್ ಹಳ್ಳದಲ್ಲಿ ಅವನು ವಾಸಿಸಿದನು. ಕಾಗೆಗಳು ಅವನಿಗೆ ಬೆಳಿಗ್ಗೆ ಹಾಗು ಸಂಜೆ ರೊಟ್ಟಿ, ಮಾಂಸ, ಇವುಗಳನ್ನು ತಿನ್ನಲು ತಂದುಕೊಡುತ್ತಿದ್ದವು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.


ಕೀರ್ತನೆ: 121:1-8
ಶ್ಲೋಕ: ನನಗೆ ಒತ್ತಾಸೆ ಪ್ರಭುವಿನಿಂದ.

ಕಣ್ಣೆತ್ತಿ ನಾ ನೋಡುವೆ ಪರ್ವತದತ್ತ|
ಕೇಳುವೆ: "ನನಗೆ ಒತ್ತಾಸೆ ಎತ್ತಣಿಂದ?||
ನನಗೆ ಒತ್ತಾಸೆ ಪ್ರಭುವಿನಿಂದ|
ಭೂಮ್ಯಾಕಾಶ ಸೃಜಿಸಿದವನಿಂದ||

ನಿನ್ನ ಕಾಲೆಡವದಂತೆ ನೋಡುವನಾತ|
ತೂಕಡಿಸಲಾರನು ನಿನ್ನ ಕಾಯುವಾತ||
ಇಗೋ, ಇಸ್ರಯೇಲನು ಕಾಯುವಾತನು|
ನಿದ್ರಿಸಲಾರನು ತೂಕಡಿಸಲಾರನು||

ನಿನ್ನನ್ನು ಕಾಯುತಿಹನು ಪ್ರಭುವೇ|
ಬಲಗಡೆ ನೆರಳಂತಿಹನು ಪ್ರಭುವೇ||
ನಿನ್ನ ಬಾಧಿಸನು ಸೂರ್ಯನು|
ಹಗಲೊಳು ನಿನ್ನ ಪೀಡಿಸನು ಚಂದ್ರನು ಇರುಳೊಳು||

ಪಭು ಕಾಯುವನು ನಿನ್ನ ಪ್ರಾಣವನು|
ಸಕಲ ಕೇಡಿನಿಂದ ಕಾಪಾಡುವನು||
ಪ್ರಭು ಕಾಯುವನು ನಿನ್ನ ಆಗುಹೋಗುಗಳನು|
ಇಂದಿಗೂ ಎಂದೆಂದಿಗೂ ನಿನ್ನ ಕಾಯುವನು||

ಘೋಷಣೆ: ಕೀರ್ತನೆ 119:135
ಅಲ್ಲೆಲೂಯ, ಅಲ್ಲೆಲೂಯ!

ತೋರು ನಿನ್ನ ಮುಖದರ್ಶನ ಈ ದಾಸನಿಗೆ | ನೀ ಕಲಿಸು ನಿನ್ನ ನಿಬಂಧನೆಗಳನ್ನು ಎನಗೆ ||

ಅಲ್ಲೆಲೂಯ!

ಶುಭಸಂದೇಶ: ಮತ್ತಾಯ 5:1-12



ಆ ಕಾಲದಲ್ಲಿ ಜನರ ದೊಡ್ಡ ಗುಂಪನ್ನು ಕಂಡು ಯೇಸು ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡರು. ಅವರ ಶಿಷ್ಯರು ಸುತ್ತಲೂ ನೆರೆದರು. ಆಗ ಯೇಸು ಇಂತೆಂದು ಪ್ರಬೋಧಿಸಿದರು: "ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು. ದುಂಖಿಗಳು ಭಾಗ್ಯವಂತರು; ದೇವರು ಅವರನ್ನು ಸಂತೈಸುವರು. ವಿನಯಶೀಲರು ಭಾಗ್ಯವಂತರು; ದೇವರ ವಾಗ್ದತ್ತ ನಾಡಿಗೆ ಬಾಧ್ಯಸ್ಥರು ಅವರು. ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು. ದಯಾವಂತರು ಭಾಗ್ಯವಂತರು; ದೇವರ ದಯೆ ಅವರಿಗೆ ದೊರಕುವುದು. ನಿರ್ಮಲ ಹೃದಯಿಗಳು ಭಾಗ್ಯವಂತರು; ಅವರು ದೇವರನ್ನು ಕಾಣುವರು. ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು. ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ತಾಳುವವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು. ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು, ಆಗ ನೀವು ಭಾಗ್ಯವಂತರು, ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು. ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು."