Monday, November 9, 2026

10.11.2026 - ನಾವು ಕೇವಲ ಆಳುಗಳು; ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ,’ ಎಂದುಕೊಳ್ಳಿರಿ

ಮೊದಲನೇ ವಾಚನ: ತೀತನಿಗೆ 2: 1-8, 11-14


ಪ್ರಿಯನೇ, ನೀನಾದರೋ ಸದ್ಬೋಧನೆಗೆ ತಕ್ಕಂತೆ ಉಪದೇಶಮಾಡು. ಮದ್ಯಾಸಕ್ತಿ ಇಲ್ಲದೆಯೂ ಗೌರವಾಸಕ್ತರಾಗಿಯೂ ಆತ್ಮ ಸಂಯಮಿಗಳಾಗಿಯೂ ಇರಬೇಕೆಂದು ವೃದ್ಧರಿಗೆ ಬೋಧಿಸು.  ವಿಶ್ವಾಸ, ಪ್ರೀತಿ ಮತ್ತು ತಾಳ್ಮೆ ಅವರ ಮುಖ್ಯ ಗುಣಗಳಾಗಿರಬೇಕು. ಅಂತೆಯೇ, ವೃದ್ಧ ಸ್ತ್ರೀಯರು ಸಭ್ಯರಾಗಿ ವರ್ತಿಸಬೇಕು.  ಅವರು ಚಾಡಿ ಹೇಳಬಾರದು; ಮದ್ಯಾಸಕ್ತರಾಗಿರಬಾರದು; ಸದ್ಬೋಧಕಿಯರಾಗಿರಬೇಕೆಂದು ವಿಧಿಸು. ಅವರು ನವ ಗೃಹಿಣಿಯರಿಗೆ, ತಮ್ಮ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವಂತೆ ಬುದ್ಧಿ ಹೇಳಬೇಕು. ಗೃಹಿಣಿಯರು, ವಿವೇಕ ಬುದ್ಧಿಯುಳ್ಳವರು, ಪತಿವ್ರತೆಯರು, ಗೃಹಕೃತ್ಯಗಳನ್ನು ಗಮನಿಸುವವರು, ಸುಶೀಲೆಯರು, ಗಂಡಂದಿರಿಗೆ ವಿಧೇಯರು ಆಗಿ ಬಾಳುವುದನ್ನು ವೃದ್ಧ ಸ್ತ್ರೀಯರಿಂದ ಕಲಿತುಕೊಳ್ಳಲಿ. ಹೀಗೆ, ದೇವರ ವಾಕ್ಯಕ್ಕೆ ಯಾವ ಅಪವಾದವೂ ಬಾರದಂತೆ ಅವರು ನಡೆದುಕೊಳ್ಳಲಿ. ಹಾಗೆಯೇ, ಯುವಕರು ಎಲ್ಲ ವಿಷಯಗಳಲ್ಲೂ ಜಿತೇಂದ್ರಿಯರಾಗಿರಬೇಕೆಂದು ನೀನು ಎಚ್ಚರಿಸು. ಸತ್ಕಾರ್ಯಗಳನ್ನು ಮಾಡುವುದರಲ್ಲಿ ನೀನೇ ಮಾದರಿಯಾಗಿರಬೇಕು ಎಂಬುದನ್ನು ಮರೆಯಬೇಡ.  ನಿನ್ನ ಬೋಧನೆ ಯಥಾರ್ಥವೂ ಗಂಭೀರವೂ ಕಳಂಕರಹಿತವೂ ಆಗಿರಲಿ. ಆಗ ನಮ್ಮ ವಿರೋಧಿಗಳು ನಮ್ಮಲ್ಲಿ ತಪ್ಪು ಕಂಡು ಹಿಡಿಯಲಾಗದೆ ತಾವೇ ಅಪಮಾನಿತರಾಗುತ್ತಾರೆ. ಎಲ್ಲಾ ಮಾನವರ ಜೀವೋದ್ಧಾರಕ್ಕಾಗಿಯೇ ದೇವರ ಅನುಗ್ರಹವು ಪ್ರಕಟವಾಗಿದೆ. ನಾವು ಭಕ್ತಿಹೀನ ನಡತೆಯನ್ನೂ ಪ್ರಾಪಂಚಿಕ ವ್ಯಾಮೋಹಗಳನ್ನೂ ವಿಸರ್ಜಿಸಿ, ಈ ಲೋಕದಲ್ಲಿ ವಿವೇಕಿಗಳಾಗಿಯೂ ಪ್ರಾಮಾಣಿಕರಾಗಿಯೂ ಭಕ್ತರಾಗಿಯೂ ಜೀವಿಸಬೇಕೆಂದು ಅದು ನಮಗೆ ಬೋಧಿಸುತ್ತದೆ. ಅಲ್ಲದೆ, ಮಹೋನ್ನತ ದೇವರು ಮತ್ತು ನಮ್ಮ ಉದ್ಧಾರಕ ಯೇಸುಕ್ರಿಸ್ತರು ಮಹಿಮಾ ರೂಪದಲ್ಲಿ ನಮಗೆ ಪ್ರತ್ಯಕ್ಷವಾಗುವ ಸೌಭಾಗ್ಯವನ್ನು ನಾವು ಎದುರು ನೋಡಬೇಕೆಂದು ಅದು ಕಲಿಸುತ್ತದೆ. ಯೇಸು ಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು.  ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟರು.

ಕೀರ್ತನೆ  37: 3-4, 18, 23, 27, 29. v. 39
ಶ್ಲೋಕ:  ಸಜ್ಜನರ  ಜೀವೋದ್ಧಾರ  ಪ್ರಭುವಿನಿಂದ.

1.  ಒಳಿತನು ಮಾಡು ಪ್ರಭುವಿನಲಿ ಭರವಸೆಯಿಟ್ಟು|
ಸುರಕ್ಷಿತವಾಗಿ ಬಾಳು ಸಿರಿನಾಡಿನಲ್ಲಿದ್ದು||
ಪ್ರಭುವಿನಿಂದಲೇ ಬಯಸು ನಿನ್ನಾಂದವನು|
ನೆರವೇರಿಸುವನಾತ ನಿನ್ನ ಮನದಾಸೆಯನು||
ಶ್ಲೋಕ

2.  ಸಜ್ಜನರಿಗೆ ಸಿಗುವ ಸೊತ್ತು ಶಾಶ್ವತ|
ಪ್ರಭುವಿಗೆ ಗೊತ್ತು ಅವರ ಬಾಳಿನಂತ್ಯ||
ಪ್ರಭುವಿಗೆ ಪ್ರಿಯವು ಮಾನವನ ಪ್ರವರ್ತನ|
ಅವನ ನಡತೆಗೆ ಆತನೇ ಮಾರ್ಗದರ್ಶನ||
ಶ್ಲೋಕ

3.  ಕೆಟ್ಟದನು ಬಿಡು, ಒಳ್ಳೆಯದನು ಮಾಡು|
ಸಿರಿನಾಡಿನಲಿ ಚಿರಕಾಲ ಬಾಳು||
ಸಜ್ಜನರು ಸಿರಿನಾಡಿಗೆ ಬಾಧ್ಯಸ್ಥರು|
ಅಲ್ಲವರು ಶಾಶ್ವತವಾಗಿ ಬಾಳುವರು||
ಶ್ಲೋಕ

ಘೋಷಣೆ:-   ಕೀರ್ತನೆ 19: 8

ಅಲ್ಲೆಲೂಯ, ಅಲ್ಲೆಲೂಯ
ಪ್ರಭುವಿನ  ನಿಯಮ  ನೀತಿಬದ್ಧ; ಮನಸ್ಸಿಗದು ಗ್ರಹಿಕೆ| ಪ್ರಭುವಿನ  ಕಟ್ಟಳೆ  ಪರಿಶುದ್ದ; ಕಣ್ಣಿಗದು  ದೀವಿಗೆ || ಅಲ್ಲೆಲೂಯ.

ಶುಭಸಂದೇಶ: ಲೂಕ 17: 7-10


“ನಿಮಗೆ ಒಬ್ಬ ಆಳಿದ್ದಾನೆಂದು ಭಾವಿಸೋಣ. ಅವನು ಹೊಲ ಉತ್ತೋ, ಕುರಿ ಮೇಯಿಸಿಯೋ ಮನೆಗೆ ಬರುತ್ತಾನೆ. ಬಂದಾಕ್ಷಣವೇ, ‘ಬಾ, ನನ್ನೊಂದಿಗೆ ಊಟಮಾಡು,’ ಎಂದು ನಿಮ್ಮಲ್ಲಿ ಯಾರಾದರೂ ಅವನಿಗೆ ಹೇಳುತ್ತಾರೆಯೇ? ಇಲ್ಲ. ಅದಕ್ಕೆ ಬದಲಾಗಿ ‘ಊಟ ಸಿದ್ಧಮಾಡು; ನಾನು ಊಟಮಾಡಿ ಮುಗಿಸುವ ತನಕ ನಡುಕಟ್ಟಿಕೊಂಡು ನನಗೆ ಉಪಚಾರಮಾಡು. ಅನಂತರ ನೀನು ಊಟಮಾಡುವೆಯಂತೆ,’ ಎಂದು ಹೇಳುತ್ತಾರಲ್ಲವೇ? ತಮ್ಮ ಆಜ್ಞೆಯ ಪ್ರಕಾರ ನಡೆದುಕೊಂಡ ಆಳಿಗೆ ಅವರು ಕೃತಜ್ಞತೆ ಸಲ್ಲಿಸುತ್ತಾರೆಯೇ? ಇಲ್ಲ. ಹಾಗೆಯೇ ನೀವು ಸಹ. ನಿಮಗೆ ವಿಧಿಸಿದ್ದನ್ನು ಮಾಡಿ ಮುಗಿಸಿದ ನಂತರ, ‘ನಾವು ಕೇವಲ ಆಳುಗಳು; ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ,’ ಎಂದುಕೊಳ್ಳಿರಿ,” ಎಂದರು.

09.11.2026 - ಈ ದೇವಾಲಯವನ್ನು ಕೆಡವಿಬಿಡಿ, ಮೂರು ದಿನದಲ್ಲಿ ಅದನ್ನು ಪುನಃ ಎಬ್ಬಿಸುವೆನು

 ಮೊದಲನೇ ವಾಚನ: ಯೆಜೆಕಿಯೇಲಾ 47:1-2, 8-9, 12











ಆಮೇಲೆ ಆ ಪುರುಷ ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದು ತಂದನು: ಇಗೋ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವದಕಡೆಗೆ ಹರಿಯುತ್ತಿತ್ತು. (ದೇವಸ್ಥಾನ ಪೂರ್ವಾಭಿಮುಖವಾಗಿತ್ತು). ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಬಲಿಪೀಠದ ದಕ್ಷಿಣದಲ್ಲಿ ಹರಿಯುತ್ತಿತ್ತು. ಆಗ ಅವನು ನನ್ನನ್ನು ಉತ್ತರ ಹೆಬ್ಬಾಗಿಲಿನಿಂದ ದೇವಾಲಯದ ಹೊರಗಿನ ಮಾರ್ಗವಾಗಿ ಸುತ್ತಿಸಿಕೊಂಡು ಪೂರ್ವದ ಹೆಬ್ಬಾಗಿಲಿಗೆ ಕರೆದುತಂದನು. ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲಮೆಲ್ಲನೆ ಹರಿಯುವ ನೀರು ಕಾಣಿಸಿತು. ಆಗ ಅವನು ನನಗೆ ಹೀಗೆ ಹೇಳಿದನು: “ಈ ಪ್ರವಾಹ ಪೂರ್ವಪ್ರಾಂತ್ಯಕ್ಕೆ ಹೊರಟು ಅರಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು; ದೇವಸ್ಥಾನದಿಂದ ಹೊರಟ ಪ್ರವಾಹವು ಲವಣಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು. ಈ ತೊರೆ ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪು ಗುಂಪಾಗಿ ಚಲಿಸುವ ಸಕಲವಿಧ ಜಲ ಜಂತುಗಳು ಬದುಕಿ ಬಾಳುವುವು; ವಿೂನುಗಳು ತಂಡೋಪ ತಂಡವಾಗಿರುವುವು. ಈ ನೀರು ಸಮುದ್ರಕ್ಕೆ ಬೀಳಲು ಆ ನೀರೂ ಸಿಹಿಯಾಗುವುದು; ಈ ತೊರೆ ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವುದು. ತೊರೆಯ ಎರಡು ದಡಗಳಲ್ಲಿಯೂ ಸಕಲ ಫಲವೃಕ್ಷಗಳು ಬೆಳೆಯುವುವು. ಅವುಗಳ ಎಲೆ ಬಾಡದು, ಹಣ್ಣು ತೀರದು. ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳು ತಿಂಗಳಲ್ಲಿಯೂ ಹೊಸ ಹೊಸ ಫಲವನ್ನು ಕೊಡುತ್ತಲಿರುವುವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಅನುಕೂಲಿಸುವುವು.”

ಕೀರ್ತನೆ: 46:3,4, 5-6, 8, 11
ಶ್ಲೋಕ: ನದಿಯೊಂದು ಆನಂದಗೊಳಿಸುವುದು ದೇವನಗರವನು ಪುನೀತಗೊಳಿಸುವುದು ಪರಾತ್ಪರನಾ ನಿವಾಸವನು 

ಎರಡನೇ ವಾಚನ: 1 ಕೊರಿಂಥಿಯಾಯರಿಗೆ 3:9-11, 16-17


ಸಹೋದರರೇ, ನಾವು ದೇವರ ಸಹಕಾರ್ಮಿಕರು. ನೀವು ದೇವರೆ ಸಾಗುವಳಿ ಮಾಡುವ ಹೊಲ; ಅವರೆ ನಿರ್ಮಿಸುತ್ತಿರುವ ಮಂದಿರ. ದೇವರು ನನಗಿತ್ತ ವರದಾನಗಳಿಗೆ ಅನುಸಾರವಾಗಿ ನಾನು ಚತುರ ಶಿಲ್ಪಿಯಂತೆ ಅಸ್ತಿವಾರ ಹಾಕಿದೆ. ಇನ್ನೊಬ್ಬನು ಅದರ ಮೇಲೆ ಕಟ್ಟುತ್ತಿದ್ದಾನೆ. ಆದರೆ ಕಟ್ಟುವ ಪ್ರತಿಯೊಬ್ಬನು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಲಿ. ಈಗಾಗಲೇ ಅಸ್ತಿವಾರ ಹಾಕಲಾಗಿದೆ. ಯೇಸುಕ್ರಿಸ್ತರೇ ಆ ಅಸ್ತಿವಾರ. ಇದಲ್ಲದೆ, ಬೇರೆ ಅಸ್ತಿವಾರವನ್ನು ಯಾರೂ ಹಾಕಲಾಗದು. ನೀವು ದೇವರ ಆಲಯವಾಗಿದ್ದೀರಿ. ದೇವರ ಆತ್ಮವು ನಿಮ್ಮಲ್ಲಿ ವಾಸಿಸುತ್ತದೆಂದು ನಿಮಗೆ ಚೆನ್ನಾಗಿ ತಿಳಿದಿದೆ. ಯಾವನಾದರೂ ದೇವಾಲಯವನ್ನು ನಾಶಮಾಡಿದರೆ ದೇವರು ಅವನನ್ನು ನಾಶಮಾಡುತ್ತಾರೆ. ದೇವರ ಆಲಯವು ಪವಿತ್ರವಾದುದು. ನೀವೇ ಆ ಆಲಯ.

ಶುಭಸಂದೇಶ: ಯೋವಾನ್ನ 2:13-22


















ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿದ್ದುದರಿಂದ ಯೇಸುಸ್ವಾಮಿ ಜೆರುಸಲೇಮಿಗೆ ತೆರಳಿದರು. ಅಲ್ಲಿಯ ಮಹಾದೇವಾಲಯದಲ್ಲಿ ದನ, ಕುರಿ ಮತ್ತು ಪಾರಿವಾಳಗಳನ್ನು ಮಾರುವವರು ಮತ್ತು ನಾಣ್ಯವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿದ್ದರು. ಅದನ್ನು ಕಂಡ ಯೇಸು, ಹಗ್ಗವನ್ನು ಚಾವಟಿಯಂತೆ ಹೆಣೆದು ಅದರಿಂದ ಅವರನ್ನೆಲ್ಲಾ ದೇವಾಲಯದಿಂದ ಹೊರಗಟ್ಟಿದರು. ದನಕುರಿಗಳನ್ನು ಓಡಿಸಿದರು. ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಕೆಡವಿ, ಚಿಲ್ಲರೆ ಹಣವನ್ನು ಚೆಲ್ಲಿದರು. ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವನ್ನು ಇಲ್ಲಿಂದ ತೆಗೆದುಕೊಂಡು ಹೊರಡಿ. ನನ್ನ ಪಿತನ ಆಲಯವನ್ನು ಸಂತೆಯನ್ನಾಗಿ ಮಾಡಬೇಡಿ,” ಎಂದು ಹೇಳಿದರು. ‘ನಿನ್ನ ಆಲಯದ ಮೇಲಿನ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,’ ಎಂದು ಪವಿತ್ರಗ್ರಂಥದಲ್ಲೇ ಬರೆದಿರುವ ವಾಕ್ಯವು ಶಿಷ್ಯರಿಗೆ ಆಗ ನೆನಪಾಯಿತು. ಯೆಹೂದ್ಯರು, “ಇಷ್ಟೆಲ್ಲಾ ಮಾಡಲು ನಿನಗೆ ಅಧಿಕಾರವಿದೆ ಎಂದು ರುಜುವಾತು ಪಡಿಸುವುದಕ್ಕೆ ಯಾವ ಪವಾಡವನ್ನು ಮಾಡಿ ತೋರಿಸಬಲ್ಲೆ?” ಎಂದು ಯೇಸುವನ್ನು ಪ್ರಶ್ನಿಸಿದರು. ಅದಕ್ಕೆ ಯೇಸು, “ಈ ದೇವಾಲಯವನ್ನು ಕೆಡವಿಬಿಡಿ, ಮೂರು ದಿನದಲ್ಲಿ ಅದನ್ನು ಪುನಃ ಎಬ್ಬಿಸುವೆನು,” ಎಂದು ಉತ್ತರಕೊಟ್ಟರು. ಚಕಿತರಾದ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟಲು ನಲವತ್ತಾರು ವರ್ಷಗಳು ಹಿಡಿದಿವೆ. ನೀನು ಮೂರು ದಿನಗಳಲ್ಲೇ ಅದನ್ನು ಎಬ್ಬಿಸಬಲ್ಲೆಯಾ?” ಎಂದು ಕೇಳಿದರು. ಯೇಸು ಹೇಳಿದ್ದು ತಮ್ಮ ದೇಹವೆಂಬ ದೇಗುಲವನ್ನು ಕುರಿತು. ಅವರು ಸತ್ತು ಪುನರುತ್ಥಾನ ಹೊಂದಿದ ಬಳಿಕ ಶಿಷ್ಯರು ಅವರ ಈ ಮಾತುಗಳನ್ನು ಸ್ಮರಿಸಿಕೊಂಡರು. ಪವಿತ್ರಗ್ರಂಥದಲ್ಲೂ ಯೇಸುವಿನ ಮಾತಿನಲ್ಲೂ ಅವರಿಗೆ ಆಗ ವಿಶ್ವಾಸ ಹುಟ್ಟಿತು.