ಮೊದಲನೇ ವಾಚನ: ಪೌಲನು ತೀತನಿಗೆ ಬರೆದ ಪತ್ರದಿಂದ 3: 1-7
ಪ್ರಿಯನೇ, ಆಳುವವರಿಗೂ ಅಧಿಕಾರಿಗಳಿಗೂ ಕ್ರೈಸ್ತ ವಿಶ್ವಾಸಿಗಳು ವಿಧೇಯರಾಗಿ ನಡೆದು ಕೊಳ್ಳಬೇಕೆಂದು ಜ್ಞಾಪಕ ಪಡಿಸು. ಎಲ್ಲಾ ಸತ್ಕಾರ್ಯಗಳನ್ನು ಕೈಗೊಳ್ಳಲು ಅವರು ಸಿದ್ಧರಿರಬೇಕು. ಅವರು ಯಾರನ್ನೂ ದೂಷಿಸದೆ, ಯಾರೊಡನೆಯೂ ಜಗಳವಾಡದೆ, ಸಾಧು ಗುಣದಿಂದ ಎಲ್ಲರೊಡನೆ ಸೌಜನ್ಯದಿಂದ ನಡೆದುಕೊಳ್ಳಲಿ. ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿ ಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು. ಹೀಗಿರುವಾಗ, ಜಗದ್ರಕ್ಷಕರಾದ ದೇವರ ದಯೆಯೂ ಅವರ ಜನಪ್ರೇಮವೂ ಪ್ರಕಟವಾದವು. ಆಗ ಅವರೇ ನಮ್ಮನ್ನು ಉದ್ಧರಿಸಿದರು. ನಮ್ಮ ಸ್ವಂತ ಪುಣ್ಯ ಕಾರ್ಯಗಳು ನಮಗೆ ಈ ಉದ್ಧಾರವನ್ನು ತರಲಿಲ್ಲ. ಪುನರ್ಜನ್ಮವನ್ನು ಸೂಚಿಸುವ ಸ್ನಾನದಿಂದಲೂ ನೂತನ ಜೀವವನ್ನೀಯುವ ಪವಿತ್ರಾತ್ಮರಿಂದಲೂ ಅವರೇ ನಮ್ಮನ್ನು ಕರುಣೆಯಿಂದ ಉದ್ಧಾರ ಮಾಡಿದರು. ಪವಿತ್ರಾತ್ಮರನ್ನು ನಮ್ಮ ಉದ್ಧಾರಕ ಯೇಸು ಕಿಸ್ತರ ಮುಖಾಂತರ ದೇವರು ನಮಗೆ ಧಾರಾಳವಾಗಿ ಅನುಗ್ರಹಿಸಿದ್ದಾರೆ. ಹೀಗೆ ದೈವಾನುಗ್ರಹದಿಂದ ನಾವು ದೇವರೊಡನೆ ಸತ್ಸಂಬಂಧವನ್ನು ಹೊಂದಿದೆವು. ನಿತ್ಯ ಜೀವದ ಭರವಸೆಯನ್ನು ಪಡೆದು ಆ ಜೀವಕ್ಕೆ ಬಾಧ್ಯಸ್ಥರಾದೆವು. ಇದು ಸತ್ಯವಾದ ಮಾತು.
ಕೀರ್ತನೆ: (ಕೀರ್ತನೆ 25: 4)
ಶ್ಲೋಕ: ಪ್ರಭು ಕುರಿಗಾಹಿಯಾಗಿರಲು ನನಗೆ ಕುಂದುಕೊರತೆಗಳೆಲ್ಲಿಯವು ಎನಗೆ?
1. ಪ್ರಭು ಕುರಿಗಾಹಿಯಾಗಿರಲು ನನಗೆ|
ಕುಂದುಕೊರತೆಗಳೆಲ್ಲಿಯವು ಎನಗೆ?||
ಹಸಿರುಗಾವಲುಗಳಲೆನ್ನ ತಂಗಿಸುವನು|
ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು|
ನನ್ನ ಪ್ರಾಣವನಾತ ಪುನಶ್ಚೆತನಗೊಳಿಸುವನು||
ಶ್ಲೋಕ
2. ತನ್ನ ನಾಮ ನಿಮಿತ್ತ ಸನ್ಮಾರ್ಗದಲ್ಲಿ ನಡೆಸುವನು|
ಎನಗೆ ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ||
ನಿನ್ನ ಕುರಿಗೋಲು, ಊರುಗೋಲು, ಧೈರ್ಯವನ್ನು ತರುವುದೆನಗೆ|
ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ||
ಶ್ಲೋಕ
3. ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಣುಂದೆಯೇ ನನಗೌತಣವನು|
ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು||
ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ|
ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ||
ಶ್ಲೋಕ
ಘೋಷಣೆ
(ಕೀರ್ತನೆ 25: 4)
ಅಲ್ಲೆಲೂಯ, ಅಲ್ಲೆಲೂಯ.
ನಿನ್ನ ಮಾರ್ಗವನು ಪ್ರಭೂ, ನನಗೆ ತೋರಿಸು | ನೀನೊಪ್ಪುವ ಪಥದಲಿ ನಾ ನಡೆಯ ಕಲಿಸು ||
ಅಲ್ಲೆಲೂಯ.
ಶುಭಸಂದೇಶ: ಲೂಕ 17:11-19
ಯೇಸುಸ್ವಾಮಿ ಜೆರುಸಲೇಮಿಗೆ ಪ್ರಯಾಣ ಮಾಡುತ್ತಾ ಸಮಾರಿಯ ಹಾಗೂ ಗಲಿಲೇಯ ಗಡಿಗಳ ನಡುವೆ ಹಾದು ಹೋಗುತ್ತಿದ್ದರು. ಒಂದು ಗ್ರಾಮವನ್ನು ಸಮೀಪಿಸಿದಾಗ ಕುಷ್ಟ ರೋಗದಿಂದ ನರಳುತ್ತಿದ್ದ ಹತ್ತು ಮಂದಿ ಅವರಿಗೆ ಎದುರಾಗಿ ಬಂದರು. ದೂರದಲ್ಲೇ ನಿಂತು, "ಯೇಸುವೇ, ಗುರುವೇ, ನಮ್ಮ ಮೇಲೆ ಕರುಣೆಯಿಡಿ," ಎಂದು ಕೂಗಿ ಕೇಳಿಕೊಂಡರು, ಯೇಸು ಅವರನ್ನು ನೋಡಿ, "ನೀವು ಯಾಜಕರ ಬಳಿಗೆ ಹೋಗಿರಿ. ಅವರು ನಿಮ್ಮನ್ನು ಪರೀಕ್ಷಿಸಲಿ," ಎಂದರು. ಅಂತೆಯೇ, ಅವರು ದಾರಿಯಲ್ಲಿ ಹೋಗುತ್ತಿರುವಾಗಲೇ ಗುಣ ಹೊಂದಿದರು. ಅವರಲ್ಲಿ ಒಬ್ಬನು ತಾನು ಗುಣಹೊಂದಿದ್ದನ್ನು ಕಂಡು, ಹರ್ಷೋದ್ಗಾರದಿಂದ ದೇವರನ್ನು ಸ್ತುತಿಸುತ್ತಾ ಹಿಂದಿರುಗಿ ಬಂದನು. ಯೇಸುವಿನ ಪಾದಕ್ಕೆ ಸಾಷ್ಟಾಂಗವೆರಗಿ ಕೃತಜ್ಞತೆಯನ್ನು ಸಲ್ಲಿಸಿದನು. ಇವನೋ ಸಮಾರಿಯದವನು! ಆಗ ಯೇಸು, "ಹತ್ತುಮಂದಿ ಗುಣ ಹೊಂದಿದರಲ್ಲವೆ? ಮಿಕ್ಕ ಒಂಭತ್ತು ಮಂದಿ ಎಲ್ಲಿ? ದೇವರನ್ನು ಸ್ತುತಿಸುವುದಕ್ಕೆ ಈ ಹೊರನಾಡಿನವನ ಹೊರತು ಬೇರಾರೂ ಬರಲಿಲ್ಲವೇ?" ಎಂದರು. ಆನಂತರ ಆ ಸಮಾರಿಯದವನಿಗೆ, "ಎದ್ದು ಹೋಗು; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ ," ಎಂದು ಹೇಳಿದರು.

