ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

Showing posts with label ಶುಭಸಂದೇಶ. Show all posts
Showing posts with label ಶುಭಸಂದೇಶ. Show all posts

02.01.24 - ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ



ಮೊದಲನೇ ವಾಚನ: 1 ಯೊವಾನ್ನ 2: 22-28


ಯೇಸುವೇ ಕ್ರಿಸ್ತ ಎಂಬುದನ್ನು ಯಾರು ಅಲ್ಲಗಳೆಯುತ್ತಾನೋ ಅವನೇ ಅಸತ್ಯವಾದಿ; ಅವನೇ ಕ್ರಿಸ್ತ ವಿರೋಧಿ. ಅವನು ಪಿತನನ್ನು ಮತ್ತು ಪುತ್ರನನ್ನು ತಿರಸ್ಕರಿಸುತ್ತಾನೆ. ಪುತ್ರನನ್ನು ತಿರಸ್ಕರಿಸುವವನು ಪಿತನನ್ನೂ ತಿರಸ್ಕರಿಸುತ್ತಾನೆ. ಪುತ್ರನನ್ನು ಅಂಗೀಕರಿಸುವವನು ಪಿತನನ್ನೂ ಅಂಗೀಕರಿಸುತ್ತಾನೆ. ಮೊದಲಿನಿಂದಲೂ ನೀವು ಕೇಳಿದ ಸಂದೇಶ ನಿಮ್ಮಲ್ಲಿ ನೆಲೆಸಿದರೆ ಪುತ್ರನಲ್ಲಿಯೂ ಪಿತನಲ್ಲಿಯೂ ನೀವು ಕೇಳಿದ ಸಂದೇಶ ನಿಮ್ಮಲ್ಲಿ ನೆಲೆಸಿದರೆ ಪುತ್ರನಲ್ಲಿಯೂ ನೀವು ನೆಲೆಸುತ್ತೀರಿ. ಕ್ರಿಸ್ತ ಯೇಸು ನಮಗೆ ವಾಗ್ದಾನ ಮಾಡಿರುವ ನಿತ್ಯ ಜೀವ ಇದೇ. ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಬೇಕೆಂದಿರುವವರನ್ನು ಕುರಿತು ಇದನ್ನು ನಿಮಗೆ ಬರೆದಿದ್ದೇನೆ. ನೀವು ಕ್ರಿಸ್ತ ಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತ ಯೇಸುವಿನಲ್ಲಿ ನೆಲೆಸಿರಿ. ಹೌದು ಪ್ರಿಯ ಮಕ್ಕಳೇ, ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ, ಅವರ ಪುನರಾಗಮನದ ಪ್ರಯುಕ್ತ ಅವರ ಮುಂದೆ ನಾವು ನಾಚಿಕೆ ಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಂಡಿರೋಣ.

ಕೀರ್ತನೆ: 98:1, 2-3, 3-4

ಶ್ಲೋಕ: ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ ನಮ್ಮ ದೇವ ಸಾಧಿಸಿದ ಜಯಗಳಿಕೆ

ಸಂತ ಯೊವಾನ್ನನು ಬರೆದ ಶುಭ ಸಂದೇಶದಿಂದ ವಾಚನ  - 1: 19-28


ಜೆರುಸಲೇಮಿನ ಯೆಹೂದ್ಯ ಅಧಿಕಾರಿಗಳು, ಯಾಜಕರನ್ನೂ ಲೇವಿಯರನ್ನೂ ಯೊವಾನ್ನನ ಬಳಿಗೆ ಕಳುಹಿಸಿದರು. ಇವರು “ನೀನು ಯಾರು?” ಎಂದು ಪ್ರಶ್ನಿಸಿದರು. ಯೊವಾನ್ನನು ಅದಕ್ಕೆ ಉತ್ತರವಾಗಿ,”ಅಭಿಷಿಕ್ತನಾದ ಲೋಕೋದ್ಧಾರಕ ನಾನಲ್ಲ,” ಎಂದು ಸ್ಪಷ್ಟವಾಗಿ ಹೇಳಿದನು. ಏನನ್ನೂ ಮರೆಮಾಚಲಿಲ್ಲ. ಹಾಗಾದರೆ “ನೀನು ಎಲೀಯನೋ?” ಎಂದು ಕೇಳಲು ‘ಅಲ್ಲ’ ಎಂದನು. “ನೀನು ಬರಬೇಕಾಗಿದ್ದ ಪ್ರವಾದಿಯಿರಬಹುದೇ?” ಅವರು ಮತ್ತೆ ಕೇಳಲು , ಅದೂ ಅಲ್ಲ,” ಎಂದು ಮರು ನುಡಿದನು. “ಹಾಗಾದರೆ ನೀನು ಯಾರೆಂದು ನಮಗೆ ತಿಳಿಸು.ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರಕೊಡಬೇಕಾಗಿದೆ. ನಿನ್ನನು ಕುರಿತು ನೀನು ಏನು ಹೇಳುತ್ತಿ?” ಎಂದು ಅವರು ಮತ್ತೊಮ್ಮೆ ಕೇಳಿದರು. ಅದಕ್ಕೆ ಯೊವಾನ್ನನು,”ಫ್ರಭುವಿನ ಮಾರ್ಗವನ್ನು ನೇರಗೊಳಿಸಿರೆಂಬ ಬೆಂಗಾಡಿನಲ್ಲಿ ಕೂಗುವವನ ಸ್ವರವೇ ನಾನು”,ಎಂದು ಯೆಶಾಯ ಪ್ರವಾದಿಯ ಮಾತುಗಳಲ್ಲೇ ಉತ್ತರಕೊಟ್ಟನು. ಆಗ ಫರಿಸಾಯರ ಕಡೆಯಿಂದ ಬಂದಿದ್ದ ಕೆಲವರು,”ನೀನು ಲೋಕೋದ್ಧಾರಕನಾಗಲಿ, ಎಲೀಯನಾಗಲಿ, ಬರಬೇಕಾಗಿದ್ದ ಪ್ರವಾದಿಯೇ ಆಗಲಿ ಅಲ್ಲವೆಂದ ಮೇಲೆ ಸ್ನಾನದೀಕ್ಷೆ ಕೊಡುವುದೇಕೆ? ಎಂದು ಪ್ರಶ್ನಿಸಿದರು. ಪ್ರತ್ಯುತ್ತರವಾಗಿ ಯೊವಾನ್ನನು “ನಾನು ನಿಮಗೆ ನೀರಿನಿಂದ ಸ್ನಾನ ದೀಕ್ಷೆ ಕೊಡುತ್ತಿದ್ದೇನೆ. ನಿಮಗೆ ತಿಳಿಯದ ಒಬ್ಬ ವ್ಯಕ್ತಿ ನಿಮ್ಮ ನಡುವೆ ಇದ್ದಾರೆ. ನನ್ನ ಬಳಿಕ ಬರಬೇಕಾಗಿದ್ದವರು ಅವರೇ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,” ಎಂದನು. ಯೊವಾನ್ನನು ಸ್ನಾನ ದೀಕ್ಷೆ ಕೊಡುತ್ತಿದ್ದ ಜೋರ್ಡಾನ್ ನದಿಯ ಆಚೆ ದಡದಲ್ಲಿದ್ದ ಬೆಥಾನಿಯ ಎಂಬಲ್ಲಿ ಇದೆಲ್ಲವೂ ನೆಡೆಯಿತು.

17.11.20 - “ಇಂದು, ಈ ಮನೆ ಉದ್ಧಾರವಾಯಿತು. ಇವನು ಕೂಡ ಅಬ್ರಹಾಮನ ವಂಶಕ್ಕೆ ಸೇರಿದವನಲ್ಲವೆ?"

ಮೊದಲನೇ ವಾಚನ: ಪ್ರಕಟಣಾ ಗ್ರಂಥ 3:1-6, 14-22


“ಸಾರ್ದಿಸ್‍ನಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ದೇವರ ಸಪ್ತ ಆತ್ಮಗಳನ್ನೂ ಸಪ್ತ ನಕ್ಷತ್ರಗಳನ್ನೂ ಹೊಂದಿರುವಾತನು ನೀಡುವ ಸಂದೇಶವಿದು: ನಿನ್ನ ಕೃತ್ಯಗಳನ್ನು ನೀನು ಬಲ್ಲೆ. ಹೆಸರಿಗೆ ಮಾತ್ರ ನೀನು ಜೀವಂತನಾಗಿರುವೆ. ಆದರೆ ವಾಸ್ತವವಾಗಿ ನೀನು ಸತ್ತಂತೆಯೇ ಸರಿ. ಎಚ್ಚೆತ್ತು ನಿನ್ನಲ್ಲಿ ಉಳಿದಿರುವುಗಳನ್ನು ಉತ್ತೇಜನಗೊಳಿಸು; ಅವು ಸಾವಿನ ದವಡೆಯಲ್ಲಿವೆ. ನನ್ನ ದೇವರ ದೃಷ್ಟಿಯಲ್ಲಿ ನಿನ್ನ ಕೃತ್ಯಗಳು ಯಾವುವೂ ಸಮಗ್ರವಾಗಿರುವುದು ನನಗೆ ಕಂಡುಬಂದಿಲ್ಲ. ನಿನಗೆ ಕೊಡಲಾದ ಬೋಧನೆಯನ್ನೂ ಅದನ್ನು ನೀನು ಕೇಳಿದ ರೀತಿಯನ್ನೂ ನೆನಪಿಗೆ ತಂದುಕೋ. ಅದರಂತೆ ನಡೆದು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ನೀನು ಎಚ್ಚೆತ್ತುಕೊಳ್ಳದಿದ್ದರೆ ನಾನು ಕಳ್ಳನು ಬರುವಂತೆ ಬರುತ್ತೇನೆ. ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಧಾಳಿಮಾಡುತ್ತೇನೆಂದೇ ನಿನಗೆ ತಿಳಿಯದು. ಆದರೂ ತಮ್ಮ ಉಡುಪನ್ನು ಮಲಿನಮಾಡಿಕೊಳ್ಳದ ಕೆಲವರು ಸಾರ್ದಿಸಿನಲ್ಲಿ ಇದ್ದಾರೆ. ಅಂಥವರು ಯೋಗ್ಯರಾಗಿರುವುದರಿಂದ ಶ್ವೇತಾಂಬರರಾಗಿ ನನ್ನೊಡನೆ ನಡೆದಾಡುವರು. ಜಯಹೊಂದುವವನು ಹೀಗೆ ಶ್ವೇತಾಂಬರನಾಗುವನು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಹಾಕುವುದಿಲ್ಲ. ನನ್ನ ಪಿತನ ಸಾನ್ನಿಧ್ಯದಲ್ಲಿಯೂ ಅವರ ದೂತರ ಮುಂದೆಯೂ ಅವನು ನನ್ನವನೆಂದು ನಾನು ಒಪ್ಪಿಕೊಳ್ಳುತ್ತೇನೆ. “ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.” “ಲವೊದಿಕೀಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ವಿಶ್ವಾಸಪಾತ್ರನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲಾಧಾರನೂ ಆದ ‘ಆಮೆನ್’ ಎಂಬಾತನು ನೀಡುವ ಸಂದೇಶವಿದು : ನಿನ್ನ ಕೃತ್ಯಗಳನ್ನು ನಾನು ಬಲ್ಲೆ. ನೀನು ತಣ್ಣಗೂ ಇಲ್ಲ, ಬಿಸಿಯಾಗೂ ಇಲ್ಲ. ನೀನು ತಣ್ಣಗಾಗಲಿ, ಬಿಸಿಯಾಗಲಿ ಇದ್ದಿದ್ದರೆ ಚೆನ್ನಾಗಿತ್ತು. ನೀನು ತಣ್ಣಗೂ ಇಲ್ಲದೆ ಬಿಸಿಯಾಗೂ ಇಲ್ಲದೆ ಉಗುರು ಬೆಚ್ಚಗೆ ಇರುವುದರಿಂದ ನಾನು ನಿನ್ನನ್ನು ನನ್ನ ಬಾಯೊಳಗಿಂದ ಕಕ್ಕುತ್ತೇನೆ. ನೀನು ನಿನ್ನ ವಿಷಯವಾಗಿ, ‘ನಾನು ಐಶ್ವರ್ಯವಂತನು, ಸಿರಿಸಂಪತ್ತುಳ್ಳವನು, ಯಾವ ಕೊರತೆಯೂ ಇಲ್ಲದವನು’ ಎಂದು ಹೇಳಿಕೊಳ್ಳುತ್ತಿರುವೆ. ಆದರೆ ನೀನು ನಿರ್ಭಾಗ್ಯನು, ದುರವಸ್ಥೆಯಲ್ಲಿರುವವನು, ದರಿದ್ರನು, ಕುರುಡನು ಮತ್ತು ಬಟ್ಟೆಬರೆಯಿಲ್ಲದೆ ಬೆತ್ತಲೆಯಾಗಿರುವವನು ಎಂಬುದು ನಿನಗೆ ತಿಳಿಯದು. ಈಗ ನನ್ನ ಬುದ್ಧಿಮಾತುಗಳನ್ನು ಕೇಳು. ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟವಿಟ್ಟ ಚಿನ್ನವನ್ನು ನನ್ನಿಂದ ಕೊಂಡುಕೋ. ಲಜ್ಜಾಸ್ಪದವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಶ್ವೇತವಸ್ತ್ರಗಳನ್ನು ನನ್ನಿಂದ ಕ್ರಯಕ್ಕೆ ಕೊಂಡುಕೊಂಡು ಅವುಗಳನ್ನು ಧರಿಸಿಕೋ. ನಿನಗೆ ಕಣ್ಣು ಕಾಣಿಸುವಂತೆ ಲೇಪನವನ್ನು ನನ್ನಿಂದ ಬೆಲೆಗೆ ತೆಗೆದುಕೊಂಡು ನಿನ್ನ ಕಣ್ಣುಗಳಿಗೆ ಹಚ್ಚಿಕೋ. ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು. ಇಗೋ, ಬಾಗಿಲ ಬಳಿ ನಿಂತು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿಸಿಕೊಂಡು ಬಾಗಿಲನ್ನು ತೆರೆದರೆ ನಾನು ಮನೆಯೊಳಗೆ ಪ್ರವೇಶಿಸುತ್ತೇನೆ. ಅವನ ಸಂಗಡ ಊಟಮಾಡುತ್ತೇನೆ ಮತ್ತು ಅವನೂ ನನ್ನ ಸಂಗಡ ಊಟಮಾಡುತ್ತಾನೆ. ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.

“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ!”

ಕೀರ್ತನೆ: 15:2-3, 3-4, 5
ಶ್ಲೋಕ: ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸದಲ್ಲಿ, ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ. 

ಶುಭಸಂದೇಶ: ಲೂಕ 19:1-10


ಯೇಸುಸ್ವಾಮಿ ಜೆರಿಕೊ ಪಟ್ಟಣವನ್ನು ಪ್ರವೇಶಿಸಿ ಅದರ ಬೀದಿಗಳಲ್ಲಿ ಹಾದುಹೋಗುತ್ತಿದ್ದರು. ಅಲ್ಲಿ ಜಕ್ಕಾಯ ಎಂಬವನಿದ್ದನು. ಅವನು ಸುಂಕವಸೂಲಿಯವರ ಮುಖಂಡ ಹಾಗೂ ಧನಾಢ್ಯ. ಯೇಸು ಯಾರೆಂದು ನೋಡಬೇಕೆಂಬ ಅಪೇಕ್ಷೆ ಅವನದು. ಆದರೆ ಅವನು ಗಿಡ್ಡ ವ್ಯಕ್ತಿ. ಜನಜಂಗುಳಿಯ ಮಧ್ಯೆ ಯೇಸುವನ್ನು ನೋಡಲು ಪ್ರಯತ್ನಿಸಿದರೂ ಅವನಿಂದಾಗಲಿಲ್ಲ. ಆದಕಾರಣ ಮುಂದಕ್ಕೆ ಓಡಿಹೋಗಿ ಯೇಸು ಬರುತ್ತಿದ್ದ ಆ ಮಾರ್ಗದಲ್ಲಿ ಒಂದು ಆಲದ ಮರವನ್ನು ಕಂಡು ಅದನ್ನು ಹತ್ತಿದನು. ಯೇಸು ಆ ಸ್ಥಳಕ್ಕೆ ಬಂದು, ತಲೆಯೆತ್ತಿ ನೋಡಿ, “ಜಕ್ಕಾಯಾ, ಒಡನೆ ಇಳಿದು ಬಾ; ಈ ದಿನ ನಿನ್ನ ಮನೆಯಲ್ಲಿ ನಾನು ತಂಗಬೇಕು,” ಎಂದರು. ಜಕ್ಕಾಯನು ತಕ್ಷಣವೇ ಇಳಿದುಬಂದು ಯೇಸುವನ್ನು ಸಂತೋಷದಿಂದ ಸ್ವಾಗತಿಸಿದನು. ಇದನ್ನು ನೋಡಿದವರೆಲ್ಲರು, “ಯೇಸು ಪಾಪಿಷ್ಠನ ಮನೆಗೆ ಅತಿಥಿಯಾಗಿ ಹೋಗುತ್ತಾನಲ್ಲಾ?” ಎಂದು ಗೊಣಗುಟ್ಟಿದರು. 

ಜಕ್ಕಾಯನು ನೆರೆದಿದ್ದ ಜನರ ಮುಂದೆ ಎದ್ದುನಿಂತು ಯೇಸುವಿಗೆ, “ಪ್ರಭುವೇ, ನನ್ನ ಆಸ್ತಿಪಾಸ್ತಿಯಲ್ಲಿ ಅರ್ಧಭಾಗವನ್ನು ಬಡಬಗ್ಗರಿಗೆ ಕೊಟ್ಟುಬಿಡುತ್ತೇನೆ. ಯಾರಿಗಾದರೂ ಮೋಸಮಾಡಿ ಅವರಿಂದೇನಾದರೂ ನಾನು ಕಸಿದುಕೊಂಡಿದ್ದರೆ ಅದಕ್ಕೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು. ಆಗ ಯೇಸು, “ಇಂದು, ಈ ಮನೆ ಉದ್ಧಾರವಾಯಿತು. ಇವನು ಕೂಡ ಅಬ್ರಹಾಮನ ವಂಶಕ್ಕೆ ಸೇರಿದವನಲ್ಲವೆ? ನರಪುತ್ರನು ಬಂದಿರುವುದು ಪತಿತರನ್ನು ಅರಸಿ ಉದ್ಧರಿಸುವುದಕ್ಕೆ,” ಎಂದು ಹೇಳಿದರು.

16.11.20 - “ಯೇಸುವೇ, ದಾವೀದ ಕುಲಪುತ್ರರೇ, ನನಗೆ ದಯೆತೋರಿ,”

ಮೊದಲನೇ ವಾಚನ: ಪ್ರಕಟಣಾ ಗ್ರಂಥ 1:1-4; 2:1-5

ದೇವರು ಯೇಸುಕ್ರಿಸ್ತರಿಗಿತ್ತ ಪ್ರಕಟನೆ ಇದು. ಅತಿ ಶೀಘ್ರದಲ್ಲಿಯೇ ಸಂಭವಿಸಲಿರುವ ಘಟನೆಗಳನ್ನು ತಮ್ಮ ದಾಸರಿಗೆ ತಿಳಿಯಪಡಿಸುವುದಕ್ಕಾಗಿ ಕ್ರಿಸ್ತಯೇಸುವಿಗೆ ಪ್ರಕಟನೆಯನ್ನು ದೇವರು ದಯಪಾಲಿಸಿದರು. ಕ್ರಿಸ್ತಯೇಸು ತಮ್ಮ ದೂತನನ್ನು ಕಳುಹಿಸಿ ತಮ್ಮ ದಾಸನಾದ ಯೊವಾನ್ನನಿಗೆ ಇವುಗಳನ್ನು ಪ್ರಕಟಿಸಿದರು. ಯೊವಾನ್ನನು ದೇವರ ಸಂದೇಶಕ್ಕೂ ಕ್ರಿಸ್ತೇಸು ತಿಳಿಸಿದ ಸತ್ಯಕ್ಕೂ ಸಾಕ್ಷಾತ್ ಸಾಕ್ಷಿಯಾಗಿದ್ದಾನೆ.  ಪ್ರವಾದನಾ ಸಂದೇಶವನ್ನು ಓದುವವನು ಧನ್ಯನು: ಓದಿದ್ದನ್ನು ಕೇಳಿಸಿಕೊಳ್ಳುವವರೂ ಧನ್ಯರು ಮತ್ತು ಪ್ರವಾದನೆಯಲ್ಲಿ ಲಿಖಿತವಾಗಿರುವುದನ್ನು ಕೈಗೊಂಡು ನಡೆಯುವವರು ಸಹ ಧನ್ಯರು! ಏಕೆಂದರೆ, ಕಾಲ ಸನ್ನಿಹಿತವಾಯಿತು. ಏಷ್ಯಾಸೀಮೆಯಲ್ಲಿರುವ ಏಳು ಸಭೆಗಳಿಗೆ ಯೊವಾನ್ನನೆಂಬ ನಾನು ಬರೆಯುವುದೇನೆಂದರೆ: ವರ್ತಮಾನಕಾಲದಲ್ಲಿಇರುವಾತನೂ,’ ಭೂತಕಾಲದಲ್ಲಿಇದ್ದಾತನೂ,’ ಭವಿಷ್ಯತ್‍ಕಾಲದಲ್ಲಿಬರುವಾತನೂ’ ಆದ ದೇವರಿಂದ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ಎಫೆಸದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದಿರುವಾತನೂ ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವಾತನೂ ನೀಡುವ ಸಂದೇಶವಿದು: ನಾನು ನಿನ್ನ ಸುಕೃತ್ಯಗಳನ್ನು ಬಲ್ಲೆ. ನಿನ್ನ ಶ್ರಮಜೀವನವನ್ನು ಅರಿತು ಇದ್ದೇನೆ. ನಿನ್ನ ಸಹನಾಶಕ್ತಿಯನ್ನು ಮನಗಂಡಿದ್ದೇನೆ. ದುರ್ಜನರನ್ನು ನೀನು ಸಹಿಸಲಾರೆ ಎಂಬುದು ನನಗೆ ಗೊತ್ತು. ಪ್ರೇಷಿತರಲ್ಲದಿದ್ದರೂ ಪ್ರೇಷಿತರೆಂದು ಹೇಳಿಕೊಳ್ಳುವವರನ್ನು ನೀನು ಪರಿಶೋಧಿಸಿರುವೆ. ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ. ಹೌದು, ಸಹನಾಶಕ್ತಿ ನಿನಗಿದೆ. ಬೇಸರಗೊಳ್ಳದೆ ನನ್ನ ಹೆಸರಿನ ನಿಮಿತ್ತ ನೀನು ಕಷ್ಟಸಂಕಟಗಳನ್ನು ತಾಳಿಕೊಂಡೆ. ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ: ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ. ಆದುದರಿಂದ ನೀನು ಹೇಗೆ ಪತನಹೊಂದಿದೆ ಎಂಬುದನ್ನು ಜ್ಞಾಪಿಸಿಕೋ. ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ನೀನು ಮೊದಲು ಮಾಡಿದ ಸುಕೃತ್ಯಗಳನ್ನು ಸಾಧಿಸು. ನೀನು ಪಾಪಕ್ಕೆ ವಿಮುಖನಾಗದೆಹೋದರೆ, ನಾನು ನಿನ್ನ ಬಳಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುತ್ತೇನೆ

 

ಕೀರ್ತನೆ: 1:1-2, 3, 4, 6

ಶುಭಸಂದೇಶ: ಲೂಕ 18:35-43


ಯೇಸುಸ್ವಾಮಿ ಜೆರಿಕೊ ಪಟ್ಟಣವನ್ನು ಸಮೀಪಿಸುತ್ತಿದ್ದಾಗ ಕುರುಡನೊಬ್ಬನು ದಾರಿಯ ಪಕ್ಕದಲ್ಲಿ ಕುಳಿತು ಭಿಕ್ಷೆ ಬೇಡುತ್ತಿದ್ದನು. ಜನಸಂದಣಿಯ ಶಬ್ದವನ್ನು ಆಲಿಸಿ, ಅದೇನೆಂದು ವಿಚಾರಿಸಿದನು. “ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾರೆ,” ಎಂದು ಅವನಿಗೆ ತಿಳಿಸಲಾಯಿತು. ಕೂಡಲೇ ಅವನು, “ಯೇಸುವೇ, ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಗಟ್ಟಿಯಾಗಿ ಕೂಗಿಕೊಂಡನು. ಮುಂದೆ ಹೋಗುತ್ತಿದ್ದವರು, “ಸುಮ್ಮನಿರು” ಎಂದು ಅವನನ್ನು ಗದರಿಸಿದರು. ಅವನಾದರೋ, “ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಮತ್ತಷ್ಟು ಗಟ್ಟಿಯಾಗಿ ಕೂಗಿಕೊಂಡನು. ಇದನ್ನು ಕೇಳಿ ಯೇಸು, ಅಲ್ಲೇ ನಿಂತು, ಅವನನ್ನು ತಮ್ಮ ಬಳಿಗೆ ಕರೆದುತರುವಂತೆ ಅಪ್ಪಣೆ ಮಾಡಿದರು. ಅವನು ಹತ್ತಿರಕ್ಕೆ ಬಂದಾಗ, “ನನ್ನಿಂದ ನಿನಗೇನಾಗಬೇಕು?” ಎಂದು ಕೇಳಲು ಅವನು, “ಸ್ವಾಮೀ, ನನಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದನು. ಯೇಸು ಅವನಿಗೆ, “ದೃಷ್ಟಿಯನ್ನು ಪಡೆ; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಮಾಡಿದೆ,” ಎಂದರು. ಆ ಕ್ಷಣವೇ ಅವನಿಗೆ ದೃಷ್ಟಿಬಂದಿತು. ದೇವರನ್ನು ಸ್ತುತಿಸುತ್ತಾ ಅವನೂ ಯೇಸುವನ್ನು ಹಿಂಬಾಲಿಸಿದನು. ಇದನ್ನು ನೋಡಿದ ಜನರೆಲ್ಲರೂ ದೇವರನ್ನು ಕೊಂಡಾಡಿದರು.

15.11.20 - "ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು,"

ಮೊದಲನೇ ವಾಚನ: ಜ್ಞಾನೋಕ್ತಿಗಳು 31:10-13, 19-20, 30-31

ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು? ಆಕೆ ಹವಳಕ್ಕಿಂತಲೂ ಬಹು ಮೌಲ್ಯಳು. ಗಂಡನು ಆಕೆಯಲ್ಲಿ ಹೃತ್ಪೂರ್ವಕ ನಂಬಿಕೆಯಿಡುವನು; ಅವನಿಗೆ ಆದಾಯದ ಕೊರತೆ ಇರದು. ಜೀವಮಾನವಿಡೀ ಆಕೆ ಅವನಿಗೆ ಒಳ್ಳೆಯದನ್ನೆ ಮಾಡುವಳು; ಎಂದಿಗೂ ಆಕೆ ಅವನಿಗೆ ಕೇಡನ್ನು ಬಗೆಯಳು. ಉಣ್ಣೆಯನ್ನೂ ಸೆಣಬನ್ನೂ ಹುಡುಕಿ ತರುವಳು; ತನ್ನ ಕೈಗಳಿಂದಲೇ ಬಟ್ಟೆಯನ್ನು ನೇಯುವಳು. ರಾಟೆಯನ್ನು ತಾನೆ ಆಡಿಸುತ್ತಾಳೆ; ಕದಿರನ್ನು ಕೈಯಿಂದ ಹಿಡಿಯುತ್ತಾಳೆ. ಬಡವರಿಗೆ ಕೈಬಿಚ್ಚಿ ಕೊಡುತ್ತಾಳೆ; ದಿಕ್ಕಿಲ್ಲದವರಿಗೆ ಕೈಚಾಚಿ ನೀಡುತ್ತಾಳೆ. ಆಕರ್ಷಣೆ ನೆಚ್ಚತಕ್ಕದಲ್ಲ. ಅಲಂಕಾರ ನೆಲೆಯಾದುದಲ್ಲ; ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವಳೆ ಸ್ತುತ್ಯಾರ್ಹಳು. ಆಕೆಯ ಕೈ ಕೆಲಸಕ್ಕೆ ತಕ್ಕ ಪ್ರತಿಫಲ ಲಭಿಸಲಿ; ಆಕೆಯ ಕಾರ್ಯಗಳೇ ಆಕೆಯನ್ನು ಪುರದ್ವಾರಗಳಲ್ಲಿ ಹೊಗಳಲಿ!

ಕೀರ್ತನೆ: 128:1-2, 3, 4-5
ಶ್ಲೋಕ: ಧನ್ಯನು ಪ್ರಭುವಿನಲಿ ಭಯಭಕ್ತಿಯುಳ್ಳವನು. 

ಎರಡನೇ ವಾಚನ: 1 ಥೆಸೆಲೋನಿಯರಿಗೆ 5:1-6


ಸಹೋದರರೇ, ಇದೆಲ್ಲ ನಡೆಯಲಿರುವ ಸಮಯ ಸಂದರ್ಭಗಳನ್ನು ಕುರಿತು ನಿಮಗೆ ಬರೆಯುವ ಅವಶ್ಯಕತೆಯಿಲ್ಲ.  ರಾತ್ರಿಯಲ್ಲಿ ಕಳ್ಳನು ಬರುವ ಹಾಗೆ ಪ್ರಭುವಿನ ದಿನವು ಬರುವುದೆಂದು ನೀವು ಚೆನ್ನಾಗಿ ಬಲ್ಲಿರಿ. ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ. ಸಹೋದರರೇ, ಕಳ್ಳನಂತೆ ಆ ದಿನವು ನಿಮ್ಮನ್ನು ದಿಗ್ಭ್ರಮೆಗೊಳಿಸದಿರಲಿ. ಏಕೆಂದರೆ, ನೀವಿನ್ನು ಅಂಧಕಾರಕ್ಕೆ ಸೇರಿದವರಲ್ಲ. ಆ ದಿನವು ದಿಢೀರನೆ ನಿಮ್ಮ ಮೇಲೆ ಬರಬಾರದು. ನೀವೆಲ್ಲರೂ ಬೆಳಕಿನ ಹಾಗೂ ಹಗಲಿನ ಮಕ್ಕಳು. ನಾವು ಕತ್ತಲೆಗಾಗಲಿ, ರಾತ್ರಿಗಾಗಲಿ ಸೇರಿದವರಲ್ಲ. ಅಂದ ಮೇಲೆ, ಇತರರಂತೆ ನಾವು ನಿದ್ದೆಮಾಡದೆ ಎಚ್ಚರವಾಗಿದ್ದು ಸ್ವಸ್ಥಚಿತ್ತರಾಗಿ ವರ್ತಿಸೋಣ.

ಶುಭಸಂದೇಶ:, ಮತ್ತಾಯ 25:14-30



ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: “ಅದೂ ಅಲ್ಲದೆ ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಇಂತಿರುವುದು: ಒಬ್ಬಾತ ಪ್ರವಾಸ ಹೊರಡಲಿದ್ದ. ತನ್ನ ಸೇವಕರನ್ನು ಕರೆದು ಅವರ ವಶಕ್ಕೆ ತನ್ನ ಆಸ್ತಿಯನ್ನು ಒಪ್ಪಿಸಿದ. ಒಬ್ಬನಿಗೆ ಐದು ತಲೆಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು - ಹೀಗೆ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ವಹಿಸಿಕೊಟ್ಟು ಹೊರಟುಹೋದ. ಐದು ತಲೆಂತು ಪಡೆದ ಸೇವಕ ಒಡನೇ ಹೋಗಿ ಆ ಮೊತ್ತದಿಂದ ವ್ಯಾಪಾರಮಾಡಿ ಇನ್ನೂ ಐದನ್ನು ಸಂಪಾದಿಸಿದ. ಎರಡು ಪಡೆದವನೂ ಹಾಗೆಯೇ ಮಾಡಿ ಇನ್ನೂ ಎರಡನ್ನು ಸಂಪಾದಿಸಿದ. ಒಂದು ತಲೆಂತು ಪಡೆದವನು ಮಾತ್ರ, ಅದನ್ನು ತೆಗೆದುಕೊಂಡು ಹೋಗಿ ಭೂಮಿ ಅಗೆದು, ಅದರಲ್ಲಿ ತನ್ನ ಧಣಿಯ ಆ ಹಣವನ್ನು ಹೂತಿಟ್ಟ. ಬಹಳ ಕಾಲವಾದ ಬಳಿಕ ಆ ಧಣಿ ಹಿಂದಿರುಗಿಬಂದ. ಸೇವಕರಿಂದ ಲೆಕ್ಕಾಚಾರ ಕೇಳಿದ. ಐದು ತಲೆಂತು ಪಡೆದವನು ಇನ್ನೂ ಐದು ತಲೆಂತುಗಳನ್ನು ಮುಂದೆ ತಂದು, ‘ಒಡೆಯಾ, ನೀವು ನನ್ನ ವಶಕ್ಕೆ ಐದು ತಲೆಂತು ಒಪ್ಪಿಸಿದಿರಿ. ಇಗೋ ನೋಡಿ, ಮತ್ತೆ ಐದು ತಲೆಂತು ಸಂಪಾದಿಸಿದ್ದೇನೆ,’ ಎಂದ. ಅದಕ್ಕೆ ಆ ಧಣಿ, “ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ, ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು,’ ಎಂದ. ಎರಡು ತಲೆಂತು ಪಡೆದಿದ್ದವನೂ ಮುಂದೆ ಬಂದು, ‘ಒಡೆಯಾ, ನೀವು ನನ್ನ ವಶಕ್ಕೆ ಎರಡು ತಲೆಂತುಗಳನ್ನು ಒಪ್ಪಿಸಿದಿರಿ. ಇಗೋ ನೋಡಿ, ಇನ್ನೂ ಎರಡು ತಲೆಂತುಗಳನ್ನು ಸಂಪಾದಿಸಿದ್ದೇನೆ,’ ಎಂದ. ಧಣಿ ಅವನಿಗೂ, ‘ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ. ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೂ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ನೀನೂ ಭಾಗಿಯಾಗು,’ ಎಂದ. ತರುವಾಯ ಒಂದು ತಲೆಂತು ಪಡೆದವನೂ ಮುಂದೆ ಬಂದ; ‘ಒಡೆಯಾ, ನಿಮ್ಮ ಮನಸ್ಸು ಕಠಿಣ ಎಂಬುದನ್ನು ನಾನು ಬಲ್ಲೆ. ನೀವು ಬಿತ್ತದ ಎಡೆಯಲ್ಲಿ ಕೊಯ್ಲುಮಾಡುವವರು; ನೀವು ತೂರದ ಎಡೆಯಲ್ಲಿ ರಾಶಿಮಾಡುವವರು; ಆದ್ದರಿಂದ ನಾನು ಭಯಪಟ್ಟೆ; ಹೋಗಿ ನಿಮ್ಮ ತಲೆಂತನ್ನು ಭೂಮಿಯಲ್ಲಿ ಹೂತಿಟ್ಟೆ. ಇಗೋ, ಸ್ವೀಕರಿಸಿ, ನಿಮ್ಮದು ನಿಮಗೆ ಸಂದಿದೆ,’ ಎಂದ. “ಆಗ ಧಣಿ ಅವನಿಗೆ, ‘ಎಲವೋ, ಮೈಗಳ್ಳನಾದ ದುಷ್ಟ ಸೇವಕ, ನಾನು ಬಿತ್ತದ ಎಡೆಯಲ್ಲಿ ಕೊಯ್ಲುಮಾಡುವವನು; ನಾನು ತೂರದ ಎಡೆಯಲ್ಲಿ ರಾಶಿಮಾಡುವವನು ಎಂದು ನಿನಗೆ ಗೊತ್ತಿತ್ತಲ್ಲವೆ? ಹಾಗಾದರೆ ನನ್ನ ಹಣವನ್ನು ನೀನು ಬಡ್ಡಿ ಅಂಗಡಿಯಲ್ಲಿ ಹಾಕಿಡಬೇಕಿತ್ತು; ನಾನು ಬಂದು ಬಡ್ಡಿಸಮೇತ ನನ್ನ ಅಸಲನ್ನು ಪಡೆಯುತ್ತಿದ್ದೆ,’ ಎಂದ. ಅನಂತರ ಪರಿಚಾರಕರಿಗೆ, ‘ಇವನಿಂದ ಆ ತಲೆಂತು ನಾಣ್ಯವನ್ನು ಕಿತ್ತು ಹತ್ತು ತಲೆಂತು ಇರುವವನಿಗೆ ಕೊಡಿ. ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ. ಅಪ್ರಯೋಜಕನಾದ ಈ ಸೇವಕನನ್ನು ಹೊರಗಿನ ಕಗ್ಗತ್ತಲೆಗೆ ದಬ್ಬಿರಿ. ಅಲ್ಲಿ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು,’ ಎಂದು ಹೇಳಿದ."

14.11.20 - "ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲುರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯ ತೀರಿಸದೆ ಹೋಗುವರೆ?"

 ಮೊದಲನೇ ವಾಚನ: 3 ಯೊಹಾನ್ನ 1:5-8

ಪ್ರಿಯನೇ, ಸಹೋದರರಿಗೆ - ಮುಖ್ಯವಾಗಿ ಅಪರಿಚಿತರಿಗೆ ಸತ್ಕಾರ್ಯವನ್ನು ಮಾಡುವುದರಲ್ಲಿ ನೀನು ತುಂಬಾ ನಿಷ್ಠಾವಂತನು. ಇಲ್ಲಿಯ ಸಭೆಯ ಮುಂದೆ ಅವರೇ ನಿನ್ನ ಪ್ರೀತ್ಯಾದರವನ್ನು ಪ್ರಶಂಶಿಸಿದ್ದಾರೆ. ಅವರು ತಮ್ಮ ಸಂಚಾರವನ್ನು ಇನ್ನೂ ಮುಂದುವರಿಸುವಂತೆ ದೇವರು ಮೆಚ್ಚುವ ರೀತಿಯಲ್ಲಿ ನೀನು ನೆರವಾಗಬೇಕು. ಅವರು ಈ ಸಂಚಾರವನ್ನು ಕೈಗೊಂಡಿರುವುದು ಕ್ರಿಸ್ತಯೇಸುವಿನ ಸೇವೆಗಾಗಿಯೆ. ಅನ್ಯಧರ್ಮೀಯರಿಂದ ಅವರು ಯಾವ ಸಹಾಯವನ್ನೂ ಸ್ವೀಕರಿಸುವವರಲ್ಲ. ಆದ್ದರಿಂದ, ಇಂಥವರಿಗೆ ನಾವು ನೆರವಾಗಲೇಬೇಕು. ಹೀಗೆ ಸತ್ಯಕ್ಕಾಗಿ ದುಡಿಯುವವರೊಂದಿಗೆ ನಾವು ಸಹಕರಿಸಬೇಕು. 

ಕೀರ್ತನೆ: 112:1-2, 3-4, 5-6
ಶ್ಲೋಕ: ಪ್ರಭುವಿನಲಿ ಭಯಭಕ್ತಿಯುಳ್ಳವನು ಧನ್ಯನು.  

ಶುಭಸಂದೇಶ: ಲೂಕ 18:1-8


ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು: “ಒಂದು ನಗರದಲ್ಲಿ ಒಬ್ಬ ನ್ಯಾಯಾಧೀಶನಿದ್ದ. ಅವನು ದೇವರಿಗೂ ಭಯಪಡುತ್ತಿರಲಿಲ್ಲ; ಮಾನವರಿಗೂ ಲಕ್ಷ್ಯಕೊಡುತ್ತಿರಲಿಲ್ಲ. ಅದೇ ಊರಿನಲ್ಲಿ ಒಬ್ಬ ವಿಧವೆಯಿದ್ದಳು. ಅವಳು ಪದೇಪದೇ ಅವನ ಬಳಿಗೆ ಬಂದು, ‘ನನ್ನ ವಿರೋಧಿ ಅನ್ಯಾಯಮಾಡಿದ್ದಾನೆ; ನನಗೆ ನ್ಯಾಯ ದೊರಕಿಸಿಕೊಡಿ,’ ಎಂದು ಕೇಳಿಕೊಳ್ಳುತ್ತಿದ್ದಳು. ಬಹುಕಾಲ ನ್ಯಾಯಾಧೀಶನು ಅವಳಿಗೆ ಕಿವಿಗೊಡಲೇ ಇಲ್ಲ. ಕೊನೆಗೆ ಅವನು, ‘ನಾನು ದೇವರಿಗೆ ಹೆದರುವವನಲ್ಲ; ಮಾನವರಿಗೆ ಲಕ್ಷ್ಯಕೊಡುವವನೂ ಅಲ್ಲ; ಇಷ್ಟಾದರೂ ಈ ವಿಧವೆಯ ಕಾಟವನ್ನು ತಪ್ಪಿಸಿಕೊಳ್ಳಲು, ಈಕೆಯ ನ್ಯಾಯ ತೀರಿಸಿಬಿಡುತ್ತೇನೆ. ಇಲ್ಲವಾದರೆ, ಈಕೆ ಪದೇಪದೇ ಬಂದು ನನ್ನ ತಲೆಕೆಡಿಸಿಬಿಟ್ಟಾಳು,’ ಎಂದುಕೊಂಡ.” ಅನಂತರ ಪ್ರಭು ಯೇಸು, “ಈ ನೀತಿಕೆಟ್ಟ ನ್ಯಾಯಾದೀಶ ಹೇಳಿಕೊಂಡ ಮಾತುಗಳನ್ನು ಕೇಳಿದಿರಲ್ಲವೆ? ಹೀಗಿರುವಲ್ಲಿ ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲುರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯ ತೀರಿಸದೆ ಹೋಗುವರೆ? ತಡಮಾಡಿಯಾರೆ? ಶೀಘ್ರವಾಗಿ ಅವರಿಗೆ ನ್ಯಾಯ ದೊರಕಿಸಿಕೊಡುವರೆಂದು ನಿಮಗೆ ಹೇಳುತ್ತೇನೆ. ಇಷ್ಟಾದರೂ ನರಪುತ್ರನು ಬರುವಾಗ ಜಗತ್ತಿನಲ್ಲಿ ವಿಶ್ವಾಸ ಇರುವುದನ್ನು ಕಾಣುವನೋ?’ ಎಂದರು.

13.11.20 - ಯಾರು ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಇಚ್ಛಿಸುತ್ತಾನೋ ಅವನು ಅದನ್ನು ಕಳೆದುಕೊಳ್ಳುತ್ತಾನೆ; "

ಮೊದಲನೇ ವಾಚನ: 2 ಯೊಹಾನ್ನ 1:4-9

ನಿನ್ನ ಮಕ್ಕಳಲ್ಲಿ ಕೆಲವರು ಪಿತನು ವಿಧಿಸಿದಂತೆ ಸತ್ಯಸಂಧರಾಗಿ ನಡೆಯುವುದನ್ನು ಕಂಡು ನನಗಾದ ಆನಂದ ಅಷ್ಟಿಷ್ಟಲ್ಲ. ಶ್ರೀಮಾತೆಯೇ, ನಾನು ಮಾಡುವ ಬಿನ್ನಹವಿದು: ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದು ಮೊತ್ತಮೊದಲಿನಿಂದಲೂ ನಮಗೆ ಕೊಡಲಾದ ಆಜ್ಞೆಯೇ ಹೊರತು ಹೊಸದೇನೂ ಅಲ್ಲ. ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಪ್ರೀತಿ. ಪ್ರೀತಿಮಾರ್ಗದಲ್ಲಿ  ನಡೆಯಬೇಕೆಂಬುದೇ ನೀವು ಮೊತ್ತಮೊದಲಿನಿಂದಲೂ ಕೇಳಿರುವ ಆಜ್ಞೆ. ಅನೇಕ ಮಂದಿ ವಂಚಕರು ಲೋಕದಲ್ಲಿ ತಲೆದೋರಿದ್ದಾರೆ. ಯೇಸುಕ್ರಿಸ್ತರು ಮನುಷ್ಯ ಆಗಿಬಂದರೆಂಬುದನ್ನು ಇವರು ಒಪ್ಪಿಕೊಳ್ಳುವುದಿಲ್ಲ. ಇಂಥವನು ವಂಚಕನೂ ಕ್ರಿಸ್ತವಿರೋಧಿಯೂ ಹೌದು. ನಿಮ್ಮ ದುಡಿಮೆಯ ಫಲವನ್ನು ಕಳೆದುಕೊಳ್ಳದೆ ಅದನ್ನು ಪೂರ್ಣವಾಗಿ ಪಡೆಯುವಂತೆ ನೀವು ಎಚ್ಚರಿಕೆ ವಹಿಸಬೇಕು. ಕ್ರಿಸ್ತಯೇಸುವಿನ ಉಪದೇಶದಲ್ಲಿ ನೆಲೆಸದೆ ಅದರ ಎಲ್ಲೆಮೀರಿ ನಡೆಯುವವನಲ್ಲಿ ದೇವರು ಇರುವುದಿಲ್ಲ. ಆ ಉಪದೇಶದಲ್ಲಿ ನೆಲೆಸಿರುವವನಲ್ಲಿ ಪಿತ ಮತ್ತು ಪುತ್ರ ಇಬ್ಬರೂ ಇರುತ್ತಾರೆ.

ಕೀರ್ತನೆ: 119:1, 2, 10, 11, 17, 18
ಶ್ಲೋಕ: ಪ್ರಭುವಿನ ಶಾಸ್ತ್ರಾನುಸಾರ ನಡೆವವರು ಧನ್ಯರು. 

ಶುಭಸಂದೇಶ:, ಲೂಕ 17:26-37


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ನೋವನ ಕಾಲದಲ್ಲಿ ನಡೆದಂತೆಯೇ ನರಪುತ್ರನು ಬರುವ ಕಾಲದಲ್ಲೂ ನಡೆಯುವುದು. ನೋವನು ನಾವೆಯನ್ನು ಹತ್ತುವ ದಿನದ ತನಕ ಜನರು ತಿನ್ನುತ್ತಾ ಕುಡಿಯುತ್ತಾ ಇದ್ದರು; ಮದುವೆ ಮಾಡಿಕೊಳ್ಳುತ್ತಾ, ಮಾಡಿಕೊಡುತ್ತಾ ಇದ್ದರು; ಜಲಪ್ರಳಯ ಬಂದು ಎಲ್ಲರನ್ನು ನಾಶಮಾಡಿತು. ಅಂತೆಯೇ, ಲೋತನ ಕಾಲದಲ್ಲೂ ನಡೆಯಿತು. ಜನರು ಅನ್ನಪಾನೀಯಗಳಲ್ಲಿ ಆಸಕ್ತರಾಗಿದ್ದರು; ಲೇವಾದೇವಿಯಲ್ಲಿ ತೊಡಗಿದ್ದರು; ನೆಡುವುದರಲ್ಲೂ ನಿರ್ಮಿಸುವುದರಲ್ಲೂ ನಿರತರಾಗಿದ್ದರು. ಲೋತನು ಸೊದೋಮ್ ಊರನ್ನು ಬಿಟ್ಟು ತೆರಳಿದ ದಿನದಂದೇ ಆಕಾಶದಿಂದ ಅಗ್ನಿ ಮತ್ತು ಗಂಧಕದ ಮಳೆ ಸುರಿದು ಎಲ್ಲರನ್ನು ನಾಶಮಾಡಿತು. ನರಪುತ್ರನು ಪ್ರತ್ಯಕ್ಷನಾಗುವ ದಿನದಲ್ಲೂ ಹಾಗೆಯೇ ನಡೆಯುವುದು. “ಆ ದಿನದಲ್ಲಿ ಮಾಳಿಗೆಯ ಮೇಲಿರುವವನು ಮನೆಯಲ್ಲಿರುವ ಸರಕುಸಾಮಗ್ರಿಗಳನ್ನು ತೆಗೆದುಕೊಳ್ಳಲು ಕೆಳಗಿಳಿಯದಿರಲಿ. ಅಂತೆಯೇ, ಹೊಲದಲ್ಲಿರುವವನು ಮನೆಗೆ ಹಿಂದಿರುಗದಿರಲಿ. ಲೋತನ ಪತ್ನಿಗಾದ ಗತಿಯನ್ನು ನೆನಪಿಗೆ ತಂದುಕೊಳ್ಳಿರಿ! “ಯಾರು ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಇಚ್ಛಿಸುತ್ತಾನೋ ಅವನು ಅದನ್ನು ಕಳೆದುಕೊಳ್ಳುತ್ತಾನೆ; ಯಾರು ತನ್ನ ಪ್ರಾಣವನ್ನು ಕಳೆದುಕೊಳ್ಳುತ್ತಾನೋ ಅವನು ಅದನ್ನು ರಕ್ಷಿಸಿಕೊಳ್ಳುತ್ತಾನೆ. ಆ ರಾತ್ರಿ ಒಂದೇ ಹಾಸಿಗೆಯಲ್ಲಿ ಇಬ್ಬರು ಮಲಗಿದ್ದರೆ, ಆ ಇಬ್ಬರಲ್ಲಿ ಒಬ್ಬನನ್ನು ತೆಗೆದುಕೊಂಡು ಹೋಗಲಾಗುವುದು; ಒಬ್ಬನನ್ನು ಬಿಡಲಾಗುವುದು. ಒಂದೇ ಕಲ್ಲಲ್ಲಿ ಬೀಸುತ್ತಿರುವ ಇಬ್ಬರು ಮಹಿಳೆಯರಲ್ಲಿ, ಒಬ್ಬಳನ್ನು ತೆಗೆದುಕೊಂಡು ಹೋಗಲಾಗುವುದು, ಇನ್ನೊಬ್ಬಳನ್ನು ಬಿಡಲಾಗುವುದು. (ಹೊಲದಲ್ಲಿದ್ದ ಇಬ್ಬರಲ್ಲಿ ಒಬ್ಬನನ್ನು ತೆಗೆದುಕೊಂಡು ಹೋಗಲಾಗುವುದು ಮತ್ತೊಬ್ಬನನ್ನು ಬಿಡಲಾಗುವುದು)” ಎಂದರು. “ಸ್ವಾಮೀ, ಇದು ಎಲ್ಲಿ ನಡೆಯುವುದು?” ಎಂದು ಶಿಷ್ಯರು ಕೇಳಿದಾಗ, ಯೇಸು, “ಹೆಣವಿದ್ದಲ್ಲಿ ರಣಹದ್ದುಗಳು ಬಂದು ಕೂಡುವುವು,” ಎಂದರು.

12.11.20 - “ಕಾಲ ಒಂದು ಬರುವುದು, ಆಗ ನರಪುತ್ರನೊಂದಿಗೆ ಒಂದು ದಿನವನ್ನಾದರೂ ಕಳೆಯಲು ಹಂಬಲಿಸುವಿರಿ"

ಮೊದಲನೇ ವಾಚನ: ಫಿಲೇಮೊನ 1:7-20


ಸಹೋದರನೇ, ನಿನ್ನ ಪ್ರೀತಿಯನ್ನು ನೆನೆದು ನಾನು ಆನಂದವನ್ನೂ ಆದರಣೆಯನ್ನೂ ಪಡೆಯುತ್ತಿದ್ದೇನೆ. ದೇವಜನರೆಲ್ಲರ ಹೃದಯಗಳನ್ನು ನೀನು ಉಲ್ಲಾಸಪಡಿಸುತ್ತಿರುವೆ. ಆದಕಾರಣ, ನೀನು ಮಾಡಬೇಕಾದುದನ್ನು ಮಾಡು ಎಂದು ಆಜ್ಞಾಪಿಸಲು ಕ್ರಿಸ್ತಯೇಸುವಿನಲ್ಲಿ ನನಗೆ ಧೈರ್ಯ ಮತ್ತು ಅಧಿಕಾರಗಳಿವೆ. ಆದರೂ ನಿನ್ನ ಮೇಲಿರುವ ಪ್ರೀತಿಯ ನಿಮಿತ್ತ ನಾನು ನಿನ್ನಲ್ಲಿ ವಿನಂತಿಸುತ್ತೇನೆ: ವೃದ್ಧಪ್ರಾಯನೂ ಮತ್ತು ಕ್ರಿಸ್ತಯೇಸುವಿಗೋಸ್ಕರ ಈಗ ಸೆರೆಯಾಳೂ ಆಗಿರುವ ಪೌಲನೆಂಬ ನಾನು ಒನೇಸಿಮನ ಪರವಾಗಿ ನಿನ್ನಲ್ಲಿ ವಿಜ್ಞಾಪಿಸುತ್ತೇನೆ. ಇವನು ಯೇಸುವಿನಲ್ಲಿ ನನ್ನ ಸ್ವಂತ ಮಗನಂತಿದ್ದಾನೆ. ಸೆರೆಮನೆಯಲ್ಲೇ ನಾನು ಅವನನ್ನು ಆಧ್ಯಾತ್ಮಿಕವಾಗಿ ಪಡೆದೆನು. ಹಿಂದೆ ಅವನು ನಿನಗೆ ಪ್ರಯೋಜಕನಾಗಿರಲಿಲ್ಲ. ಈಗಲಾದರೋ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ. ನನಗಂತೂ ಇವನು ಪ್ರಾಣದಂತಿದ್ದರೂ ಈಗ ನಿನ್ನ ಬಳಿಗೆ ಕಳುಹಿಸುತ್ತಿದ್ದೇನೆ. ಶುಭಸಂದೇಶಕ್ಕೋಸ್ಕರ ನಾನು ಸೆರೆಮನೆಯಲ್ಲಿರುವಾಗ ನಿನ್ನ ಬದಲಾಗಿ ನನಗೆ ಸಹಾಯಮಾಡಲು ಇವನನ್ನು ಇಲ್ಲಿಯೇ ಉಳಿಸಿಕೊಳ್ಳಲು ಇಷ್ಟವಿತ್ತು. ಆದರೆ ನನಗೆ ಸಹಾಯವಾಗಲೆಂದು ನಿನ್ನನ್ನು ಖಡ್ಡಾಯಪಡಿಸಲು ನನಗಂತೂ ಇಷ್ಟವಿಲ್ಲ. ನೀನಾಗಿಯೇ ನಿನ್ನ ಸ್ವಂತ ಇಚ್ಛೆಯಿಂದ ಹಾಗೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ಆದ್ದರಿಂದ ನಿನ್ನ ಒಪ್ಪಿಗೆಯಿಲ್ಲದೆ ನಾನು ಏನನ್ನೂ ಮಾಡುತ್ತಿಲ್ಲ. ಸ್ವಲ್ಪಕಾಲ ಒನೇಸಿಮನು ನಿನ್ನಿಂದ ದೂರವಿದ್ದುದಕ್ಕೆ ಕಾರಣ ಆತನು ಸದಾಕಾಲ ನಿನ್ನವನಾಗುವುದಕ್ಕೋ ಏನೋ. ಈಗ ಅವನು ನಿನ್ನ ಬಳಿಗೆ ಬರುತ್ತಿರುವುದು ಕೇವಲ ಗುಲಾಮನಂತೆ ಅಲ್ಲ. ಅದಕ್ಕಿಂತಲೂ ಬಹಳ ಮೇಲಾದವನಂತೆ, ಕ್ರಿಸ್ತಯೇಸುವಿನಲ್ಲಿ ಪ್ರಿಯ ಸಹೋದರನಂತೆ, ಅವನೆಂದರೆ ನನಗೆಷ್ಟೋ ಪ್ರೀತಿ. ಹಾಗಾದರೆ ನಿನ್ನ ಸೇವಕನೂ ನಮ್ಮ ಪ್ರಭುವಿನಲ್ಲಿ ನಿನ್ನ ಪ್ರಿಯ ಸಹೋದರನೂ ಆಗಿರುವ ಅವನ ಬಗ್ಗೆ ನಿನಗೆ ಮತ್ತಷ್ಟು ಪ್ರೀತಿ ಇರಬೇಕಲ್ಲವೇ? ಆದ್ದರಿಂದ ಕ್ರಿಸ್ತಯೇಸುವಿನಲ್ಲಿ ನಿನಗೂ ನನಗೂ ಅನ್ಯೋನ್ಯತೆ ಇದೆಯೆಂದು ನೀನು ಪರಿಗಣಿಸುವುದಾದರೆ ನನ್ನನ್ನು ಹೇಗೆ ಸ್ವಾಗತಿಸುತ್ತಿದ್ದೆಯೋ ಹಾಗೆಯೇ ಇವನನ್ನು ಸ್ವಾಗತಿಸು. ಇವನು ನಿನಗೇನಾದರೂ ಅನ್ಯಾಯ ಮಾಡಿದ್ದಾದರೆ, ಅಥವಾ ಇವನಿಂದ ನಿನಗೇನಾದರೂ ಸಲ್ಲಬೇಕಾದ ಬಾಕಿಯಿದ್ದರೆ, ಅದೆಲ್ಲವನ್ನೂ ನನ್ನ ಲೆಕ್ಕಕ್ಕೆ ಹಾಕು. ಅದನ್ನು ಪೌಲನೆಂಬ ನಾನೇ ಕೊಟ್ಟು ತೀರಿಸುತ್ತೇನೆ ಎಂದು ನನ್ನ ಹಸ್ತಾಕ್ಷರದಲ್ಲೇ ಬರೆದುಕೊಡುತ್ತಿದ್ದೇನೆ. ಆದರೆ ಈಗ ನೀನು ಏನಾಗಿದ್ದೀಯೋ ಅದು ನನ್ನಿಂದಲೇ. ಹೀಗೆ ನೀನೇ ನನಗೆ ಸಾಲಗಾರನಾಗಿದ್ದೀ ಎಂದು ನಾನು ಹೇಳಬೇಕಾಗಿಲ್ಲ. ಹೌದು, ಪ್ರಿಯ ಸಹೋದರನೇ, ಪ್ರಭುವಿನ ಹೆಸರಿನಲ್ಲಿ ಇದೊಂದು ಉಪಕಾರವನ್ನು ನನಗೆ ಮಾಡಿಕೊಡು; ಕ್ರಿಸ್ತಯೇಸುವಿನಲ್ಲಿ ನನ್ನ ಹೃದಯ ಆನಂದಿಸುವಂತೆ ಮಾಡು.

ಕೀರ್ತನೆ: 146:7, 8-9, 9-10
ಶ್ಲೋಕ: ಇಸ್ರಯೇಲ ಕುಲದೇವರು ಯಾರಿಗೆ ಉದ್ದಾರಕನೂ ಅವನೇ ಧನ್ಯನು 

ಶುಭಸಂದೇಶ: ಲೂಕ 17:20-25


ದೇವರ ಸಾಮ್ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಕೇಳಿದಾಗ ಯೇಸುಸ್ವಾಮಿ ಪ್ರತ್ಯುತ್ತರವಾಗಿ, “ದೇವರ ಸಾಮ್ರಾಜ್ಯವು ಕಣ್ಣುಗಳಿಗೆ ಕಾಣಿಸುವಂತೆ ಬರುವುದಿಲ್ಲ. ‘ಇಗೋ, ಅದು ಇಲ್ಲಿದೆ ಅಥವಾ ಅಲ್ಲಿದೆ,’ ಎಂದು ಹೇಳುವಂತಿಲ್ಲ. ಏಕೆಂದರೆ, ದೇವರ ಸಾಮ್ರಾಜ್ಯವು ನಿಮ್ಮೊಳಗೇ ಇದೆ,” ಎಂದರು.  ಅನಂತರ ಶಿಷ್ಯರನ್ನು ಉದ್ದೇಶಿಸಿ, “ಕಾಲ ಒಂದು ಬರುವುದು, ಆಗ ನರಪುತ್ರನೊಂದಿಗೆ ಒಂದು ದಿನವನ್ನಾದರೂ ಕಳೆಯಲು ಹಂಬಲಿಸುವಿರಿ. ಆದರೆ ನಿಮಗದು ಲಭಿಸದು. ‘ಇಗೋ, ಇಲ್ಲಿದ್ದಾನೆ; ಅಗೋ ಅಲ್ಲಿದ್ದಾನೆ,’ ಎಂದು ಜನರು ಸುದ್ದಿ ಎಬ್ಬಿಸುವರು. ಅದನ್ನು ನೀವು ನೋಡಲು ಹೋಗಬೇಡಿ; ಅಂಥವರನ್ನು ಹಿಂಬಾಲಿಸಲೂ ಬೇಡಿ. ಆಕಾಶದ ಒಂದು ದಿಕ್ಕಿನಿಂದ ಇನ್ನೊಂದು ದಿಕ್ಕಿನವರೆಗೆ ಮಿನುಗಿ ಹೊಳೆಯುವ ಮಿಂಚಿನಂತೆ ನರಪುತ್ರನು ತಾನು ಬರುವ ಕಾಲದಲ್ಲಿ ಕಾಣಿಸಿಕೊಳ್ಳುವನು. ಆದರೆ ಅದಕ್ಕೆ ಮೊದಲು ಆತನು ತೀವ್ರ ಯಾತನೆಯನ್ನು ಅನುಭವಿಸಿ ಈ ಪೀಳಿಗೆಯಿಂದ ತಿರಸ್ಕೃತನಾಗಬೇಕು."ಎಂದರು. 

10.11.20 - "ನೀವು ಸಹ. ನಿಮಗೆ ವಿಧಿಸಿದ್ದನ್ನು ಮಾಡಿ ಮುಗಿಸಿದ ನಂತರ, ‘ನಾವು ಕೇವಲ ಆಳುಗಳು; ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ,’ ಎಂದುಕೊಳ್ಳಿರಿ,”

 ಮೊದಲನೇ ವಾಚನ: ತೀತನಿಗೆ 2:1-8, 11-14

ಪ್ರಿಯನೇ, ನೀನಾದರೋ ಸದ್ಬೋಧನೆಗೆ ತಕ್ಕಂತೆ ಉಪದೇಶಮಾಡು. ಮದ್ಯಾಸಕ್ತಿ ಇಲ್ಲದೆಯೂ ಗೌರವಾಸಕ್ತರಾಗಿಯೂ ಆತ್ಮಸಂಯಮಿಗಳಾಗಿಯೂ ಇರಬೇಕೆಂದು ವೃದ್ಧರಿಗೆ ಬೋಧಿಸು. ವಿಶ್ವಾಸ, ಪ್ರೀತಿ ಮತ್ತು ತಾಳ್ಮೆ ಅವರ ಮುಖ್ಯ ಗುಣಗಳಾಗಿರಬೇಕು. ಅಂತೆಯೇ, ವೃದ್ಧ ಸ್ತ್ರೀಯರು ಸಭ್ಯರಾಗಿ ವರ್ತಿಸಬೇಕು, ಅವರು ಚಾಡಿಹೇಳಬಾರದು; ಮದ್ಯಾಸಕ್ತರಾಗಿರಬಾರದು; ಸದ್ಬೋಧಕಿಯರಾಗಿರಬೇಕೆಂದು ವಿಧಿಸು. ಅವರು ನವಗೃಹಿಣಿಯರಿಗೆ, ತಮ್ಮ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವಂತೆ ಬುದ್ಧಿ ಹೇಳಬೇಕು. ಗೃಹಿಣಿಯರು, ವಿವೇಕ ಬುದ್ಧಿಯುಳ್ಳವರು, ಪತಿವ್ರತೆಯರು, ಗೃಹಕೃತ್ಯಗಳನ್ನು ಗಮನಿಸುವವರು, ಸುಶೀಲೆಯರು, ಗಂಡಂದಿರಿಗೆ ವಿಧೇಯರು ಆಗಿ ಬಾಳುವುದನ್ನು ವೃದ್ಧಸ್ತ್ರೀಯರಿಂದ ಕಲಿತುಕೊಳ್ಳಲಿ. ಹೀಗೆ, ದೇವರ ವಾಕ್ಯಕ್ಕೆ ಯಾವ ಅಪವಾದವೂ ಬಾರದಂತೆ ಅವರು ನಡೆದುಕೊಳ್ಳಲಿ. ಹಾಗೆಯೇ, ಯುವಕರು ಎಲ್ಲ ವಿಷಯಗಳಲ್ಲೂ ಜಿತೇಂದ್ರಿಯರಾಗಿರಬೇಕೆಂದು ನೀನು ಎಚ್ಚರಿಸು. ಸತ್ಕಾರ್ಯಗಳನ್ನು ಮಾಡುವುದರಲ್ಲಿ ನೀನೇ ಮಾದರಿಯಾಗಿರಬೇಕು ಎಂಬುದನ್ನು ಮರೆಯಬೇಡ. ನಿನ್ನ ಬೋಧನೆ ಯಥಾರ್ಥವೂ ಗಂಭೀರವೂ ಕಳಂಕರಹಿತವೂ ಆಗಿರಲಿ. ಆಗ ನಮ್ಮ ವಿರೋಧಿಗಳು ನಮ್ಮಲ್ಲಿ ತಪ್ಪು ಕಂಡುಹಿಡಿಯಲಾಗದೆ ತಾವೇ ಅಪಮಾನಿತರಾಗುತ್ತಾರೆ. ಎಲ್ಲಾ ಮಾನವರ ಜೀವೋದ್ಧಾರಕ್ಕಾಗಿಯೇ ದೇವರ ಅನುಗ್ರಹವು ಪ್ರಕಟವಾಗಿದೆ. ನಾವು ಭಕ್ತಿಹೀನ ನಡತೆಯನ್ನೂ ಪ್ರಾಪಂಚಿಕ ವ್ಯಾಮೋಹಗಳನ್ನೂ ವಿಸರ್ಜಿಸಿ, ಈ ಲೋಕದಲ್ಲಿ ವಿವೇಕಿಗಳಾಗಿಯೂ ಪ್ರಾಮಾಣಿಕರಾಗಿಯೂ ಭಕ್ತರಾಗಿಯೂ ಜೀವಿಸಬೇಕೆಂದು ಅದು ನಮಗೆ ಬೋಧಿಸುತ್ತದೆ. ಅಲ್ಲದೆ, ಮಹೋನ್ನತ ದೇವರು ಮತ್ತು ನಮ್ಮ ಉದ್ಧಾರಕ ಯೇಸುಕ್ರಿಸ್ತರು ಮಹಿಮಾರೂಪದಲ್ಲಿ ನಮಗೆ ಪ್ರತ್ಯಕ್ಷವಾಗುವ ಸೌಭಾಗ್ಯವನ್ನು ನಾವು ಎದುರುನೋಡಬೇಕೆಂದು ಅದು ಕಲಿಸುತ್ತದೆ. ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.

ಕೀರ್ತನೆ: 37:3-4, 18, 23, 27, 29

ಶ್ಲೋಕ: ಸಜ್ಜನರ ಜೀವೋದ್ದಾರ ಪ್ರಭುವಿನಿಂದ  

ಶುಭಸಂದೇಶ: ಲೂಕ 17:7-10


ಯೇಸುಸ್ವಾಮಿ ತಮ್ಮ ಶಿಷ್ಯರನ್ನುದ್ದೇಶಿಸಿ: “ನಿಮಗೆ ಒಬ್ಬ ಆಳಿದ್ದಾನೆಂದು ಭಾವಿಸೋಣ. ಅವನು ಹೊಲ ಉತ್ತೋ, ಕುರಿ ಮೇಯಿಸಿಯೋ ಮನೆಗೆ ಬರುತ್ತಾನೆ. ಬಂದಾಕ್ಷಣವೇ, ‘ಬಾ, ನನ್ನೊಂದಿಗೆ ಊಟಮಾಡು,’ ಎಂದು ನಿಮ್ಮಲ್ಲಿ ಯಾರಾದರೂ ಅವನಿಗೆ ಹೇಳುತ್ತಾರೆಯೇ? ಇಲ್ಲ. ಅದಕ್ಕೆ ಬದಲಾಗಿ ‘ಊಟ ಸಿದ್ಧಮಾಡು; ನಾನು ಊಟಮಾಡಿ ಮುಗಿಸುವ ತನಕ ನಡುಕಟ್ಟಿಕೊಂಡು ನನಗೆ ಉಪಚಾರಮಾಡು. ಅನಂತರ ನೀನು ಊಟಮಾಡುವೆಯಂತೆ,’ ಎಂದು ಹೇಳುತ್ತಾರಲ್ಲವೇ? ತಮ್ಮ ಆಜ್ಞೆಯ ಪ್ರಕಾರ ನಡೆದುಕೊಂಡ ಆಳಿಗೆ ಅವರು ಕೃತಜ್ಞತೆ ಸಲ್ಲಿಸುತ್ತಾರೆಯೇ? ಇಲ್ಲ. ಹಾಗೆಯೇ ನೀವು ಸಹ. ನಿಮಗೆ ವಿಧಿಸಿದ್ದನ್ನು ಮಾಡಿ ಮುಗಿಸಿದ ನಂತರ, ‘ನಾವು ಕೇವಲ ಆಳುಗಳು; ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ,’ ಎಂದುಕೊಳ್ಳಿರಿ,” ಎಂದರು.

11.11.20 - "ನಾವು ಕೇವಲ ಆಳುಗಳು; ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ,’ ಎಂದುಕೊಳ್ಳಿರಿ,” ಎಂದರು.

ಮೊದಲನೇ ವಾಚನ: ತೀತನಿಗೆ 3:1-7


ಆಳುವವರಿಗೂ ಅಧಿಕಾರಿಗಳಿಗೂ ಕ್ರೈಸ್ತವಿಶ್ವಾಸಿಗಳು ವಿಧೇಯರಾಗಿ ನಡೆದುಕೊಳ್ಳಬೇಕೆಂದು ಜ್ಞಾಪಕಪಡಿಸು. ಎಲ್ಲಾ ಸತ್ಕಾರ್ಯಗಳನ್ನು ಕೈಗೊಳ್ಳಲು ಅವರು ಸಿದ್ಧರಿರಬೇಕು. ಅವರು ಯಾರನ್ನೂ ದೂಷಿಸದೆ, ಯಾರೊಡನೆಯೂ ಜಗಳವಾಡದೆ, ಸಾಧುಗುಣದಿಂದ ಎಲ್ಲರೊಡನೆ ಸೌಜನ್ಯದಿಂದ ನಡೆದುಕೊಳ್ಳಲಿ. ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು. ಹೀಗಿರುವಾಗ, ಜಗದ್ರಕ್ಷಕರಾದ ದೇವರ ದಯೆಯೂ ಅವರ ಜನಪ್ರೇಮವೂ ಪ್ರಕಟವಾದವು.ಆಗ ಅವರೇ ನಮ್ಮನ್ನು ಉದ್ಧರಿಸಿದರು. ನಮ್ಮ ಸ್ವಂತ ಪುಣ್ಯಕಾರ್ಯಗಳು ನಮಗೆ ಈ ಉದ್ಧಾರವನ್ನು ತರಲಿಲ್ಲ. ಪುನರ್ಜನ್ಮವನ್ನು ಸೂಚಿಸುವ ಸ್ನಾನ ಹಾಗೂ ನೂತನ ಜೀವವನ್ನೀಯುವ ಪವಿತ್ರಾತ್ಮ ಈ ಮೂಲಕ ಅವರೇ ನಮ್ಮನ್ನು ಕರುಣೆಯಿಂದ ಉದ್ಧಾರಮಾಡಿದರು. ಪವಿತ್ರಾತ್ಮರನ್ನು ನಮ್ಮ ಉದ್ಧಾರಕ ಯೇಸುಕ್ರಿಸ್ತರ ಮುಖಾಂತರ ದೇವರು ನಮಗೆ ಧಾರಾಳವಾಗಿ ಅನುಗ್ರಹಿಸಿದ್ದಾರೆ. ಹೀಗೆ ದೈವಾನುಗ್ರಹದಿಂದ ನಾವು ದೇವರೊಡನೆ ಸತ್ಸಂಬಂಧವನ್ನು ಹೊಂದಿದೆವು. ನಿತ್ಯಜೀವದ ಭರವಸೆಯನ್ನು ಪಡೆದು ಆ ಜೀವಕ್ಕೆ ಬಾಧ್ಯಸ್ಥರಾದೆವು. ಇದು ಸತ್ಯವಾದ ಮಾತು. 

ಕೀರ್ತನೆ: 23:1-3, 3-4, 5, 6
ಶ್ಲೋಕ: ಪ್ರಭು ಕುರಿಗಾಹಿಯಾಗಿರಲು ನನಗೆ, ಕುಂದುಕೊರತೆಗಳೆಲ್ಲಿಯವು ಎನಗೆ? 

ಶುಭಸಂದೇಶ: ಲೂಕ 17:11-19


“ನಿಮಗೆ ಒಬ್ಬ ಆಳಿದ್ದಾನೆಂದು ಭಾವಿಸೋಣ. ಅವನು ಹೊಲ ಉತ್ತೋ, ಕುರಿ ಮೇಯಿಸಿಯೋ ಮನೆಗೆ ಬರುತ್ತಾನೆ. ಬಂದಾಕ್ಷಣವೇ, ‘ಬಾ, ನನ್ನೊಂದಿಗೆ ಊಟಮಾಡು,’ ಎಂದು ನಿಮ್ಮಲ್ಲಿ ಯಾರಾದರೂ ಅವನಿಗೆ ಹೇಳುತ್ತಾರೆಯೇ? ಇಲ್ಲ. ಅದಕ್ಕೆ ಬದಲಾಗಿ ‘ಊಟ ಸಿದ್ಧಮಾಡು; ನಾನು ಊಟಮಾಡಿ ಮುಗಿಸುವ ತನಕ ನಡುಕಟ್ಟಿಕೊಂಡು ನನಗೆ ಉಪಚಾರಮಾಡು. ಅನಂತರ ನೀನು ಊಟಮಾಡುವೆಯಂತೆ,’ ಎಂದು ಹೇಳುತ್ತಾರಲ್ಲವೇ? ತಮ್ಮ ಆಜ್ಞೆಯ ಪ್ರಕಾರ ನಡೆದುಕೊಂಡ ಆಳಿಗೆ ಅವರು ಕೃತಜ್ಞತೆ ಸಲ್ಲಿಸುತ್ತಾರೆಯೇ? ಇಲ್ಲ. ಹಾಗೆಯೇ ನೀವು ಸಹ. ನಿಮಗೆ ವಿಧಿಸಿದ್ದನ್ನು ಮಾಡಿ ಮುಗಿಸಿದ ನಂತರ, ‘ನಾವು ಕೇವಲ ಆಳುಗಳು; ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ,’ ಎಂದುಕೊಳ್ಳಿರಿ,” ಎಂದರು.

23.06.2020 - “ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು"

ಮೊದಲನೇ ವಾಚನ: 2 ಅರಸುಗಳು 19:9-11, 14-21, 31-35, 36

ಸುಡಾನಿನ ರಾಜ ತಿರ್ಹಾಕನು ತನಗೆ ವಿರುದ್ಧವಾಗಿ ಹೊರಟಿದ್ದಾನೆ ಎಂಬ ಸುದ್ದಿ ಅಸ್ಸೀರಿಯದ ಅರಸನಿಗೆ ಮುಟ್ಟಿತು. ಆಗ ಅವನು ಜುದೇಯದ ಅರಸನಾದ ಹಿಜ್ಕೀಯನಿಗೆ, “ಜೆರುಸಲೇಮ್ ನನ್ನ ವಶವಾಗುವುದಿಲ್ಲವೆಂದು ನೀನು ನಂಬುವ ದೇವರು ನಿನಗೆ ಹೇಳಿ ನಿನ್ನನ್ನು ಮೋಸಗೊಳಿಸಬಹುದು. ಅಸ್ಸೀರಿಯದ ಅರಸನು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಪಡಿಸಿದ್ದಾನೆಂಬ ಸಮಾಚಾರ ನಿನಗೆ ಮುಟ್ಟಿರಬೇಕು, ಹೀಗಿರುವಲ್ಲಿ ನೀನು ಮಾತ್ರ ತಪ್ಪಿಸಿಕೊಳ್ಳುವಿಯೋ?  ಹಿಜ್ಕೀಯನು, ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ, ದೇವಾಲಯಕ್ಕೆ ಹೋಗಿ ಅದನ್ನು ಸರ್ವೇಶ್ವರ ಸ್ವಾಮಿಯ ಮುಂದೆ ತೆರೆದಿಟ್ಟು, ಹೀಗೆಂದು ಪ್ರಾರ್ಥನೆ ಮಾಡಿದನು: “ಇಸ್ರಯೇಲಿನ ದೇವರೇ, ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ. ಸರ್ವೇಶ್ವರಾ, ಕಿವಿಗೊಟ್ಟು ಕೇಳಿ; ಸರ್ವೇಶ್ವರಾ, ಕಣ್ಣಿಟ್ಟು ನೋಡಿ: ಸನ್ಹೇರೀಬನು ಜೀವಸ್ವರೂಪ ದೇವರಾದ ನಿಮ್ಮನ್ನು ನಿಂದಿಸುವುದಕ್ಕಾಗಿ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೊಳ್ಳಿ. ಸರ್ವೇಶ್ವರಾ, ಅಸ್ಸೀರಿಯದ ರಾಜರು ಸಕಲ ರಾಷ್ಟ್ರಗಳನ್ನೂ ಹಾಗೂ ಅವರ ನಾಡುಗಳನ್ನೂ ಹಾಳುಮಾಡಿದ್ದಾರೆ. ಅವರ ದೇವರುಗಳನ್ನೂ ಬೆಂಕಿಗೆ ಹಾಕಿದ್ದು ನಿಜ. ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು. ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ದೇವರು ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಈ ಅಸ್ಸೀರಿಯನ ಕೈಯಿಂದ ಬಿಡಿಸಿರಿ.” ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ:” ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಈ ಮಾತುಗಳನ್ನು ಕೇಳು: ನೀನು ಅಸ್ಸೀರಿಯದ ರಾಜನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳು ಸರ್ವೇಶ್ವರಸ್ವಾಮಿಗೆ ಮುಟ್ಟಿವೆ. ಅವರು ಅವನನ್ನು ಕುರಿತು ಹೀಗೆಂದಿದ್ದಾರೆ: ‘ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು; ನಿನ್ನ ಹಿಂದೆ ತಲೆಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಆ ಕುವರಿಯು. ಅಳಿದುಳಿದವರು ಜೆರುಸಲೇಮಿನಲ್ಲೇ ಹರಡಿಕೊಳ್ಳುವರು; ಸಿಯೋನ್ ಪರ್ವತದಲ್ಲಿ ಅಭಿವೃದ್ಧಿಯಾಗುವರು. ಸರ್ವೇಶ್ವರಸ್ವಾಮಿಯ ಆಗ್ರಹವೇ ಇದನ್ನು ಸಾಧಿಸುವುದು. “ಅಸ್ಸೀರಿಯದ ಅರಸನನ್ನು ಕುರಿತು ಸರ್ವೇಶ್ವರ ಹೇಳಿರುವ ಮಾತಿದು: ‘ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದರತ್ತ ಬಾಣವನ್ನೆಸೆಯುವುದಿಲ್ಲ, ಕವಚಧಾರಿಗಳನ್ನು ಕಳುಹಿಸುವುದಿಲ್ಲ. ಅದರ ಆಕ್ರಮಣಕ್ಕಾಗಿ ಮಣ್ಣುದಿಬ್ಬಗಳನ್ನು ಎಬ್ಬಿಸುವುದಿಲ್ಲ. ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಈ ಪಟ್ಟಣಕ್ಕೆ ಕಾಲಿಡನು. ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು,’ ಎಂದಿದ್ದಾರೆ". ಅದೇ ರೀತಿಯಲ್ಲಿ ಸರ್ವೇಶ್ವರಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಅಸ್ಸೀರಿಯರು ಬೆಳಿಗ್ಗೆ ಎದ್ದು ನೋಡುವಾಗ ಪಾಳೆಯ ತುಂಬ ಹೆಣಗಳು ಇದ್ದವು. ಆದ್ದರಿಂದ ಅಸ್ಸೀರಿಯರ ಅರಸನಾದ ಸನ್ಹೇರೀಬನು ಹಿಂದಿರುಗಿದನು. ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲೆ ವಾಸಿಸಿದನು.

ಕೀರ್ತನೆ: 48:2-4, 10-11

ಶ್ಲೋಕ: ನಿನ್ನಚಲ ಪ್ರೀತಿಯನು ದೇವಾ, ಸ್ಮರಿಸುವೆವು

ಶುಭಸಂದೇಶ: ಮತ್ತಾಯ 7:6, 12-14

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.” “ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿ, ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ ಇದೇ.” “ಕಿರಿದಾದ ಬಾಗಿಲಿನಿಂದಲೇ ಒಳಕ್ಕೆ ಹೋಗಿರಿ. ಏಕೆಂದರೆ ವಿನಾಶಕ್ಕೆ ಒಯ್ಯುವ ಬಾಗಿಲು ಹಿರಿದು; ಅದರ ಮಾರ್ಗ ಸರಾಗ; ಅದನ್ನು ಹಿಡಿಯುವವರು ಅನೇಕರು. ಅಮರ ಜೀವಕ್ಕೆ ಕೊಂಡೊಯ್ಯುವ ಮಾರ್ಗ ದುರ್ಭರ, ಅದರ ಬಾಗಿಲು ಕಿರಿದು; ಅದನ್ನು ಗುರುತಿಸುವವರೋ ಕೆಲವರು.”


22.06.2020 - "ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು"

ಮೊದಲನೇ ವಾಚನ: 2 ಅರಸುಗಳು 17:5-8, 13-15, 18

ಅಸ್ಸೀರಿಯದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಸಮಾರಿಯಕ್ಕೆ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆಹಾಕಿದನು. ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು. ಇಸ್ರಯೇಲರ ಈ ದುರ್ಗತಿಗೆ ಅವರ ದುರ್ನಡತೆಯೇ ಕಾರಣ: ಹೇಗೆಂದರೆ, ಅವರು ತಮ್ಮನ್ನು ಈಜಿಪ್ಟಿನ ಅರಸನಾದ ಫರೋಹನ ಕೈಯಿಂದ ಬಿಡಿಸಿ ಅವನ ರಾಜ್ಯದಿಂದ ಹೊರತಂದ ದೇವರಾದ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿ ಅನ್ಯದೇವತೆಗಳನ್ನು ಪೂಜಿಸಿದರು. ತಮ್ಮ ನಾಡಿನಿಂದ ಸರ್ವೇಶ್ವರ ಹೊರಡಿಸಿಬಿಟ್ಟಿದ್ದ ಜನಾಂಗಗಳ ಮತ್ತು ಇಸ್ರಯೇಲ್ ರಾಜರ ದುರಾಚಾರಗಳನ್ನು ಅವರು ಅನುಸರಿಸಿದರು. ದರ್ಶಿನಿಗಳೆನಿಸಿಕೊಂಡ ತಮ್ಮ ಪ್ರವಾದಿಗಳ ಮುಖಾಂತರ ಇಸ್ರಯೇಲ ಯೆಹೂದ್ಯರಿಗೆ, “ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೂ ನನ್ನ ದಾಸರಾದ ಪ್ರವಾದಿಗಳ ಮುಖಾಂತರ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾವಿಧಿನಿಯಮಗಳನ್ನು ಕೈಕೊಂಡು ನಡೆಯಿರಿ,” ಎಂದು ಖಂಡಿತವಾಗಿ ಹೇಳಿದರು. ಆದರೆ ಅವರು, ದೇವರಾದ ಸರ್ವೇಶ್ವರನನ್ನು ನಂಬದೆ, ಅವರ ಆಜ್ಞೆಗಳಿಗೆ ಮಣಿಯದೆಯಿದ್ದ ತಮ್ಮ ಹಿರಿಯರಂತೆ, ಕಿವಿಗೊಡದೆ ಹೋದರು. ಸರ್ವೇಶ್ವರ ತಮ್ಮ ಪೂರ್ವಜರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿವಾಕ್ಯಗಳನ್ನೂ ತಿರಸ್ಕರಿಸಿ, ಮಿಥ್ಯಾದೇವತೆಗಳನ್ನು ಪೂಜಿಸಿ ನಿಸ್ಸಾರ್ಥಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಸರ್ವೇಶ್ವರ ಆಜ್ಞಾಪಿಸಿದ್ದರೂ ಕೇಳದೆ ಆ ಜನಾಂಗಗಳನ್ನೇ ಅನುಸರಿಸಿದರು.  ಈ ಪ್ರಕಾರ ನಡೆದುದರಿಂದ ಸರ್ವೇಶ್ವರ ಅವರ ಮೇಲೆ ಕಡುಕೋಪಗೊಂಡು ಯೆಹೂದಕುಲದವರ ಹೊರತು, ಉಳಿದ ಎಲ್ಲಾ ಕುಲಗಳವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.

ಕೀರ್ತನೆ: 60:3, 4-5, 12-13

ಶ್ಲೋಕ: ಪ್ರಭೂ, ನಿನಗೆ ಪ್ರಿಯರಾದ ನಮ್ಮ ಮೊರೆಯನಾಲಿಸು

ಶುಭಸಂದೇಶ: ಮತ್ತಾಯ 7:1-5

ಯೇಸುಸ್ವಾಮಿ ತಮ್ಮ ಶಿಷ್ಯರನ್ನುದ್ದೇಶಿಸಿ, “ನೀವು ಇತರರ ಬಗ್ಗೆ ತೀರ್ಪುಕೊಡಬೇಡಿ; ಆಗ ದೇವರು ನಿಮ್ಮ ಬಗ್ಗೆ ತೀರ್ಪುಕೊಡುವುದಿಲ್ಲ. ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು. ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ನೀನು ಗಮನಿಸುವುದೇಕೆ? ನಿನ್ನ ಕಣ್ಣಿನಲ್ಲಿ ಒಂದು ದಿಮ್ಮಿಯೇ ಇರುವಾಗ, ‘ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ,’ ಎಂದು ನಿನ್ನ ಸೋದರನಿಗೆ ಹೇಗೆ ಹೇಳಬಲ್ಲೆ? ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು. ಅನಂತರ ನಿನ್ನ ಸೋದರನ ಕಣ್ಣಿನಿಂದ ಅಣುವನ್ನು ತೆಗೆಯಲು ನಿನ್ನ ಕಣ್ಣು ನಿಚ್ಚಳವಾಗಿ ಕಾಣಿಸುವುದು.” ಎಂದು ಹೇಳಿದರು.

21.06.2020 - ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ.

ಮೊದಲನೇ ವಾಚನ: ಪ್ರವಾದಿ ಯೆರೆಮೀಯನ ಗ್ರಂಥ 20:10-13

ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ. ಆದರೆ ನನ್ನ ಸಂಗಡ ಇರುವರು ಸರ್ವೇಶ್ವರ ಭಯಂಕರ ಶೂರನಂತೆ ನನ್ನ ಹಿಂಸಕರು ಮುಗ್ಗರಿಸಿ ಬೀಳುವರು ಜಯಸಾಧಿಸದೆ. ನಾಚಿಕೆಗೆ ಈಡಾಗುವರು ತಮ್ಮ ಯೋಜನೆ ಕೈಗೂಡದೆ ಶಾಶ್ವತ ಅವಮಾನಕ್ಕೆ ಗುರಿಯಾಗುವರು ಎಂದಿಗೂ ಮರೆಯಲಾಗದಂತೆ. ಸರ್ವಶಕ್ತರಾದ ಸರ್ವೇಶ್ವರಾ, ನೀವು ಸತ್ಪುರುಷರನ್ನು ಪರಿಶೋಧಿಸುವವರು ಅಂತರಿಂದ್ರಿಯಗಳನ್ನೂ ಅಂತರಾಳವನ್ನೂ ವೀಕ್ಷಿಸುವವರು. ನನ್ನ ವ್ಯಾಜ್ಯವನ್ನು ನಿಮಗೆ ಅರಿಕೆಮಾಡಿರುವೆನು ನನ್ನ ಹಿಂಸಕರಿಗೆ ನೀವು ವಿಧಿಸುವ ಪ್ರತಿದಂಡನೆಯನ್ನು ನಾನು ನೋಡುವಂತೆ ಮಾಡಿ. ಸರ್ವೇಶ್ವರನನ್ನು ಸ್ತುತಿಸಿರಿ, ಸರ್ವೇಶ್ವರನನ್ನು ಸಂಕೀರ್ತಿಸಿರಿ. ಅವರು ಬಡವರ ಪ್ರಾಣವನ್ನು ಬಿಡಿಸಿದ್ದಾರೆ ಕೆಡುಕರ ಕೈಯಿಂದ. 

ಕೀರ್ತನೆ: 69:8-10, 14, 17, 33-35

ಶ್ಲೋಕ: ಪ್ರೀತಿಮಯ ದೇವಾ, ಸದುತ್ತರ ನೀಡೆನಗೆ

ಎರಡನೇ ವಾಚನ: ರೋಮನರಿಗೆ  5:12-15

ಒಬ್ಬ ಮನುಷ್ಯನಿಂದಲೇ ಪಾಪ, ಪಾಪದಿಂದ ಮರಣ, ಈ ಲೋಕವನ್ನು ಪ್ರವೇಶಿಸಿದವು. ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಿಗೂ ಪ್ರಾಪ್ತಿಯಾಯಿತು. ಧರ್ಮಶಾಸ್ತ್ರವನ್ನು ಕೊಡುವುದಕ್ಕೆ ಮೊದಲೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರ ಇಲ್ಲದೆ ಇದ್ದುದರಿಂದ ಪಾಪವನ್ನು ಗಣನೆಗೆ ತಂದುಕೊಳ್ಳಲಾಗಲಿಲ್ಲ. ಆದರೂ, ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣವು ದಬ್ಬಾಳಿಕೆ ನಡೆಸುತ್ತಿತ್ತು. ದೇವರ ಆಜ್ಞಾವಿಧಿಗಳನ್ನು ಮೀರಿ ಆದಾಮನು ಮಾಡಿದ ಪಾಪಕ್ಕೆ ಸಮನಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ, ಮರಣದ ಆಳ್ವಿಕೆ ನಡೆಯುತ್ತಿತ್ತು. ಆದಾಮನು ಮುಂಬರಲಿದ್ದ ಮಹಾತ್ಮನ ಮುನ್ಸೂಚನೆಯಾಗಿದ್ದಾನೆ. ಆದರೆ ಆದಾಮನ ಪಾಪಕ್ಕೂ ದೇವರ ಅನುಗ್ರಹಕ್ಕೂ ವ್ಯತ್ಯಾಸವಿದೆ. ಒಬ್ಬ ಮನುಷ್ಯನ ಅಪರಾಧದಿಂದ ಎಲ್ಲರೂ ಮರಣಕ್ಕೊಳಗಾದರು ಎಂಬುದೇನೋ ನಿಜ. ಆದರೆ ದೇವರ ಅನುಗ್ರಹವು ಅದಕ್ಕಿಂತಲೂ ಅತ್ಯಧಿಕವಾದುದು. ಅಂತೆಯೇ, ಯೇಸುಕ್ರಿಸ್ತ ಎಂಬ ಒಬ್ಬ ಮಹಾತ್ಮನ ಅನುಗ್ರಹದಿಂದ ಲಭಿಸುವ ಉಚಿತಾರ್ಥವರಗಳು ಇನ್ನೂ ಅಧಿಕಾಧಿಕವಾದುವು ಎಂಬುದೂ ನಿಜ.

ಶುಭಸಂದೇಶ: ಮತ್ತಾಯ 10:26-33

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ಜನರಿಗೆ ಭಯಪಡಬೇಡಿ. ಮುಚ್ಚುಮರೆ ಆಗಿರುವುದೆಲ್ಲ ಬಟ್ಟಬಯಲಾಗುವುದು. ಗುಟ್ಟಾಗಿ ಇರುವುದೆಲ್ಲ ರಟ್ಟಾಗುವುದು. ನಾನು ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಪ್ರಚುರಪಡಿಸಿರಿ, ಕಿವಿಮಾತಾಗಿ ಕೇಳಿದ್ದನ್ನು ಮನೆಮಾಳಿಗೆಯ ಮೇಲೆ ನಿಂತು ಸಾರಿರಿ. ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ. ಒಂದು ಕಾಸಿಗೆ ಎರಡು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೆ? ಆದರೂ ಅವುಗಳಲ್ಲಿ ಒಂದಾದರೂ ನಿಮ್ಮ ತಂದೆಯ ಅನುಮತಿಯಿಲ್ಲದೆ ನೆಲಕ್ಕೆ ಬೀಳುವುದಿಲ್ಲ. ಅಲ್ಲದೆ ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಆದುದರಿಂದ ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು. “ಜನರ ಮುಂದೆ, ತಾನು ನನ್ನವನೆಂದು ಬಹಿರಂಗವಾಗಿ ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನೆಂದು ಒಪ್ಪಿಕೊಳ್ಳುತ್ತೇನೆ. ಆದರೆ ಯಾವನಾದರೂ ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸಿದರೆ, ಅಂಥವನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನಲ್ಲವೆಂದು ನಿರಾಕರಿಸುತ್ತೇನೆ.

17.06.2020

ಮೊದಲನೇ ವಾಚನ: 2 ಅರಸುಗಳು 2:1, 6-14

ಸರ್ವೇಶ್ವರಸ್ವಾಮಿ ಎಲೀಯನನ್ನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಸೇರಿಸುವ ಸಮಯ ಬಂದಿತು. ಆಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು. ಎಲೀಯನು ಮತ್ತೆ ಎಲೀಷನಿಗೆ, “ದಯವಿಟ್ಟು ನೀನು ಇಲ್ಲೇ ಇರು; ಸರ್ವೇಶ್ವರ ನನಗೆ ಜೋರ್ಡನಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾರೆ,” ಎಂದನು. ಆಗ ಅವನು, “ಸರ್ವೇಶ್ವರನ ಆಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರಲಾಗದು,” ಎಂದು ಉತ್ತರಕೊಟ್ಟನು. ಆದುದರಿಂದ ಇಬ್ಬರೂ ಹೊರಟು ಜೋರ್ಡನ್ ನದಿಯ ದಡಕ್ಕೆ ಬಂದರು. ಪ್ರವಾದಿಮಂಡಲಿಯವರಲ್ಲಿ ಐವತ್ತುಮಂದಿ ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು. ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಿಚಿ, ಅದರಿಂದ ನೀರನ್ನು ಹೊಡೆದನು. ನೀರು ಇಬ್ಭಾಗವಾಯಿತು; ಅವರಿಬ್ಬರೂ ಒಣ ನೆಲದ ಮೇಲೆ ದಾಟಿಹೋದರು. ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟುಹೋಗುವ ಮೊದಲು ನಾನು ನಿನಗೋಸ್ಕರ ಏನು ಮಾಡಬೇಕನ್ನುತ್ತಿ ಹೇಳು?” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿಮಗಿರುವ ಆತ್ಮಶಕ್ತಿಯಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸಿ,” ಎಂದು ಬೇಡಿಕೊಂಡನು. ಆಗ ಎಲೀಯನು, “ನೀನು ದುರ್ಲಭವಾದದ್ದನ್ನು ಕೇಳಿಕೊಂಡೆ; ಆದರೂ ನನ್ನನ್ನು ನಿನ್ನ ಬಳಿಯಿಂದ ತೆಗೆಯಲಾಗುವಾಗ ನೀನು ನನ್ನನ್ನು ನೋಡುವುದಾದರೆ ಅದು ದೊರಕುವುದು; ಇಲ್ಲವಾದರೆ ದೊರಕುವುದಿಲ್ಲ,” ಎಂದನು. ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಹೋದನು. ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಯೇಲರಿಗೆ ರಥರಥಾಶ್ವಗಳಾಗಿದ್ದವರೇ,” ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದಮೇಲೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು. ಅನಂತರ ಅವನು ಮೇಲಿನಿಂದ ಬಿದ್ದ ಎಲೀಯನ ಕಂಬಳಿಯನ್ನು ತೆಗೆದುಕೊಂಡು ಜೋರ್ಡನ್ ನದೀತೀರಕ್ಕೆ ಬಂದನು. “ಎಲೀಯನ ದೇವರಾದ ಸರ್ವೇಶ್ವರನೆಲ್ಲಿ?” ಎಂದುಕೊಂಡು ಆ ಕಂಬಳಿಯಿಂದ ನೀರನ್ನು ಹೊಡೆದನು. ಅದು ಇಬ್ಭಾಗ ಆಯಿತು. ಅವನು ದಾಟಿಹೋದನು. 

ಕೀರ್ತನೆ: 31:20, 21, 24
ಶ್ಲೋಕ: ಪ್ರಭುವಿಗಾಗಿ ಕಾದಿಹೆ ಜನರೇ, ನಿಮಗಿರಲಿ ಅಭಯ

ಶುಭಸಂದೇಶ: ಮತ್ತಾಯ 6:1-6, 16-18

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: " ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಸ್ವರ್ಗದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರಕದು. ಅಂತೆಯೇ, ನೀನು ದಾನಧರ್ಮ ಮಾಡುವಾಗ ತುತೂರಿಯನ್ನು ಊದಿಸಬೇಡ. ಜನರ ಹೊಗಳಿಕೆಗಾಗಿ ಕಪಟಿಗಳು ಪ್ರಾರ್ಥನಾಮಂದಿರಗಳಲ್ಲೂ ಹಾದಿಬೀದಿಗಳಲ್ಲೂ ಹೀಗೆ ಪ್ರದರ್ಶನ ಮಾಡುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿದ್ದಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ. ಆದರೆ ನೀನು ದಾನಧರ್ಮಮಾಡುವಾಗ ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೂ ತಿಳಿಯದ ಹಾಗೆ ಗೋಪ್ಯವಾಗಿರಲಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು. “ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿ ಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ. ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೊಠಡಿಗೆ ಹೋಗು; ಬಾಗಿಲನ್ನು ಮುಚ್ಚು; ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.” “ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ. ಆದರೆ ನೀನು ಉಪವಾಸ ಕೈಗೊಂಡಾಗ ಮುಖ ತೊಳೆದುಕೊ, ತಲೆಬಾಚಿಕೊ. ಆಗ ಉಪವಾಸ ಮಾಡುವವನಂತೆ ನೀನು ಜನರಿಗೆ ಕಾಣಿಸಿಕೊಳ್ಳುವುದಿಲ್ಲ; ಅಂತರಂಗದಲ್ಲಿ ಇರುವ ನಿನ್ನ ತಂದೆಗೆ ಮಾತ್ರ ಕಾಣಿಸಿಕೊಳ್ಳುವೆ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ಅದಕ್ಕೆಲ್ಲ ಪ್ರತಿಫಲ ಕೊಡುವರು.”

29.05.2020 - “ನನ್ನ ಕುರಿಮರಿಗಳನ್ನು ಮೇಯಿಸು, ನನ್ನ ಕುರಿಗಳನ್ನು ಮೇಯಿಸು"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 25:13-21


ಕೆಲವು ದಿನಗಳಾದ ನಂತರ ರಾಜ ಅಗ್ರಿಪ್ಪನು ಬೆರ್ನಿಸಳೊಂದಿಗೆ ಫೆಸ್ತನನ್ನು ಅಭಿನಂದಿಸಲು ಸೆಜರೇಯಕ್ಕೆ ಬಂದನು. ಅವರು ಹಲವು ದಿನಗಳವರೆಗೆ ಅಲ್ಲೇ ತಂಗಿದ್ದರು. ಫೆಸ್ತನು ಪೌಲನ ವಿಷಯವನ್ನು ಅವನ ಮುಂದೆ ಪ್ರಸ್ತಾಪಿಸುತ್ತಾ, “ಫೆಲಿಕ್ಸನು ಕೈದಿಯಾಗಿ ಬಿಟ್ಟುಹೋದ ಒಬ್ಬ ವ್ಯಕ್ತಿ ಇಲ್ಲಿದ್ದಾನೆ. ನಾನು ಜೆರುಸಲೇಮಿಗೆ ಹೋಗಿದ್ದಾಗ ಯೆಹೂದ್ಯರ ಮುಖ್ಯ ಯಾಜಕರೂ ಪ್ರಮುಖರೂ ಅವನ ವಿರುದ್ಧ ಆಪಾದನೆಗಳನ್ನು ತಂದರು. ಅವನಿಗೆ ದಂಡನೆ ವಿಧಿಸುವಂತೆ ಕೇಳಿಕೊಂಡರು. ನಾನು ಅವರಿಗೆ, ‘ಆಪಾದಿತನೂ ಆಪಾದಿಸುವವರೂ ಮುಖಾಮುಖಿಯಾಗಿ ನಿಲ್ಲಬೇಕು ; ತನ್ನ ಮೇಲೆ ಹೊರಿಸಲಾದ ಆಪಾದನೆಗಳ ವಿರುದ್ಧ ವಾದಿಸಲು ಆಪಾದಿತನಿಗೆ ಅವಕಾಶ ಕೊಡಬೇಕು. ಹಾಗೆ ಮಾಡದೆ ಅವರ ಕೈಗೊಪ್ಪಿಸುವುದು ರೋಮನರ ಪದ್ಧತಿಯಲ್ಲ,’ ಎಂದು ಹೇಳಿದೆ. ಆದುದರಿಂದ ಅವರು ನನ್ನೊಡನೆ ಇಲ್ಲಿಗೆ ಬಂದರು. ನಾನು ತಡಮಾಡದೆ ಮರುದಿನವೇ ನ್ಯಾಯಸ್ಥಾನದಲ್ಲಿ ಕುಳಿತು ಅವನನ್ನು ನನ್ನ ಮುಂದೆ ತರುವಂತೆ ಆಜ್ಞೆಮಾಡಿದೆ. ಆಪಾದಿಸಿದವರು ಅವನ ವಿರುದ್ಧ ಎದ್ದುನಿಂತು ಮಾತನಾಡಿದಾಗ ನಾನು ಭಾವಿಸಿದಂತಹ ಅಪರಾಧವೊಂದನ್ನೂ ಅವನ ಮೇಲೆ ಹೊರಿಸಲಿಲ್ಲ. ಅವನೊಡನೆ ಅವರಿಗಿದ್ದ ವಾದವಿವಾದ ಅವರ ಧರ್ಮಾಚರಣೆಗಳಿಗೆ ಸಂಬಂಧಪಟ್ಟಿತ್ತು. ಯೇಸು ಎಂಬ ಒಬ್ಬ ವ್ಯಕ್ತಿಯನ್ನು ಕುರಿತೂ ವಿವಾದ ಇತ್ತು. ಯೇಸು ಸತ್ತಿದ್ದರೂ ಜೀವಂತನಾಗಿದ್ದಾನೆಂದು ಪೌಲನು ಸಾಧಿಸುತ್ತಿದ್ದನು. ಈ ವಿಷಯಗಳ ಬಗ್ಗೆ ಹೇಗೆ ವಿಚಾರಣೆಮಾಡುವುದೆಂದು ನನಗೆ ತೋಚಲಿಲ್ಲ. ಆದುದರಿಂದ, ‘ನೀನು ಜೆರುಸಲೇಮಿಗೆ ಹೋಗಿ, ಅಲ್ಲಿ ಈ ವಿಷಯಗಳ ಬಗ್ಗೆ ವಿಚಾರಣೆಗೆ ಒಳಗಾಗಲು ಇಷ್ಟಪಡುತ್ತೀಯಾ?’ ಎಂದು ಪೌಲನನ್ನು ಕೇಳಿದೆ. ಅದಕ್ಕೆ ಅವನು, ‘ಚಕ್ರವರ್ತಿಯೇ ನನ್ನ ವಾದವನ್ನು ತೀರ್ಮಾನಿಸಲಿ. ಅಲ್ಲಿಯವರೆಗೆ ನನಗೆ ರಕ್ಷಣೆ ಬೇಕು,’ ಎಂದು ವಿನಂತಿಸಿದ. ಅಂತೆಯೇ ಅವನನ್ನು ಚಕ್ರವರ್ತಿಯ ಬಳಿಗೆ ಕಳುಹಿಸಲಾಗುವ ತನಕ ಕಾವಲಿನಲ್ಲಿ ಇಡಬೇಕೆಂದು ಆಜ್ಞೆಮಾಡಿದೆ,” ಎಂದನು. 

ಕೀರ್ತನೆ: 103:1-2, 11-12, 19-20

ಶ್ಲೋಕ: ಸ್ಥಾಪಿಸಿಹನು ಪ್ರಭು ಸ್ವರ್ಗದೊಳು ಸಿಂಹಾಸನವನು

ಭಜಿಸು ನನ್ನ ಮನವೇ, ಭಜಿಸು ಪ್ರಭುವನು I
ನನ್ನ ಅಂತರಂಗವೇ, ಭಜಿಸು ಆತನನು I
ನೆನೆ ಆತನ ಪರಮಪಾವನ ನಾಮವನು II
ಭಜಿಸು ನನ್ನ ಮನವೇ, ಭಜಿಸು ಪ್ರಭುವನು I
ಮರೆಯದಿರು ಆತನ ಉಪಕಾರಗಳೊಂದನು II

ಆಕಾಶಮಂಡಲವು ಭೂಮಿಯಿಂದೆಷ್ಟೋ ಉನ್ನತ I
ದೈವಭಯವುಳ್ಳವರಿಗೆ ಆತನ ಕೃಪೆ ಅಷ್ಟೇ ಸನ್ನುತ II
ಪಡುವಣದಿಂದ ಮೂಡಣವೆಷ್ಟೋ ದೂರ I
ದೂಡಿದನಾತ ನಮ್ಮ ಪಾಪಗಳನು ಅಷ್ಟು ದೂರ II

ಸ್ಥಾಪಿಸಿಹನು ಪ್ರಭು ಸ್ವರ್ಗದೊಳು ಸಿಂಹಾಸನವನು I
ಎಲ್ಲದರ ಮೇಲೆ ನಡೆಸುತಿಹನು ರಾಜ್ಯಾಡಳಿತವನು II
ಭಜಿಸಿರಿ ಪ್ರಭುವನು ದೇವದೂತರುಗಳೇ 
ಆತನ ಆಣತಿ ಪಾಲಿಪ ಪರಾಕ್ರಮಿಗಳೇ I

ಶುಭಸಂದೇಶ: ಯೊವಾನ್ನ 21:15-19


ಊಟವಾದ ಮೇಲೆ ಯೇಸು ಸಿಮೋನ ಪೇತ್ರನನ್ನು ನೋಡಿ, ಯೊವಾನ್ನನ ಮಗನಾದ ಸಿಮೋನನೇ, ಇವರಿಗಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. ಅದಕ್ಕೆ ಪೇತ್ರನು, “ಹೌದು ಪ್ರಭೂ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದನು. ಯೇಸು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು,” ಎಂದರು. ಯೇಸು ಎರಡನೆಯ ಬಾರಿ, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಲು, “ಹೌದು ಪ್ರಭುವೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದು ಮರುನುಡಿದನು. ಯೇಸು ಅವನಿಗೆ, “ನನ್ನ ಕುರಿಗಳನ್ನು ಕಾಯಿ,” ಎಂದರು. ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು; ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ, ಕೇಳು: ತಾರುಣ್ಯದಲ್ಲಿ ನೀನೇ ನಡುಕಟ್ಟಿಕೊಂಡು ಇಷ್ಟಬಂದ ಕಡೆ ನಡೆದೆ. ವೃದ್ಧಾಪ್ಯದಲ್ಲಾದರೋ ನೀನು ಕೈಚಾಚುವೆ. ಬೇರೊಬ್ಬನು ನಿನ್ನ ನಡುಕಟ್ಟಿ ನಿನಗಿಷ್ಟವಿಲ್ಲದ ಕಡೆ ನಿನ್ನನ್ನು ನಡೆಸಿಕೊಂಡು ಹೋಗುವನು,” ಎಂದು ನುಡಿದರು. ಪೇತ್ರನು ಎಂಥ ಸಾವಿನಿಂದ ದೇವರ ಮಹಿಮೆಯನ್ನು ಬೆಳಗಿಸಲಿದ್ದಾನೆಂದು ಸೂಚಿಸಿ ಹಾಗೆ ಹೇಳಿದರು. ಇದಾದ ಮೇಲೆ ಯೇಸು ಪೇತ್ರನಿಗೆ, “ನೀನು ನನ್ನನ್ನು ಹಿಂಬಾಲಿಸಿ ಬಾ,” ಎಂದರು.