Wednesday, November 11, 2026

12.11.2026 - II ಗುರುವಾರ ಪವಿತ್ರ ಬೈಬಲ್ ವಾಚನIIದೇವರ ಸಾಮ್ರಾಜ್ಯವು ಕಣ್ಣುಗಳಿಗೆ ಕಾಣಿಸುವಂತೆ ಬರುವುದಿಲ್ಲ

 ಮೊದಲನೇ ವಾಚನ: ಫಿಲೇಮೊನ 1:7-20


ಸಹೋದರನೇ, ನಿನ್ನ ಪ್ರೀತಿಯನ್ನು ನೆನೆದು ನಾನು ಆನಂದವನ್ನೂ ಆದರಣೆಯನ್ನೂ ಪಡೆಯುತ್ತಿದ್ದೇನೆ. ದೇವಜನರೆಲ್ಲರ ಹೃದಯಗಳನ್ನು ನೀನು ಉಲ್ಲಾಸಪಡಿಸುತ್ತಿರುವೆ. ಆದಕಾರಣ, ನೀನು ಮಾಡಬೇಕಾದುದನ್ನು ಮಾಡು ಎಂದು ಆಜ್ಞಾಪಿಸಲು ಕ್ರಿಸ್ತಯೇಸುವಿನಲ್ಲಿ ನನಗೆ ಧೈರ್ಯ ಮತ್ತು ಅಧಿಕಾರಗಳಿವೆ. ಆದರೂ ನಿನ್ನ ಮೇಲಿರುವ ಪ್ರೀತಿಯ ನಿಮಿತ್ತ ನಾನು ನಿನ್ನಲ್ಲಿ ವಿನಂತಿಸುತ್ತೇನೆ: ವೃದ್ಧಪ್ರಾಯನೂ ಮತ್ತು ಕ್ರಿಸ್ತಯೇಸುವಿಗೋಸ್ಕರ ಈಗ ಸೆರೆಯಾಳೂ ಆಗಿರುವ ಪೌಲನೆಂಬ ನಾನು ಒನೇಸಿಮನ ಪರವಾಗಿ ನಿನ್ನಲ್ಲಿ ವಿಜ್ಞಾಪಿಸುತ್ತೇನೆ. ಇವನು ಯೇಸುವಿನಲ್ಲಿ ನನ್ನ ಸ್ವಂತ ಮಗನಂತಿದ್ದಾನೆ. ಸೆರೆಮನೆಯಲ್ಲೇ ನಾನು ಅವನನ್ನು ಆಧ್ಯಾತ್ಮಿಕವಾಗಿ ಪಡೆದೆನು. ಹಿಂದೆ ಅವನು ನಿನಗೆ ಪ್ರಯೋಜಕನಾಗಿರಲಿಲ್ಲ. ಈಗಲಾದರೋ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ. ನನಗಂತೂ ಇವನು ಪ್ರಾಣದಂತಿದ್ದರೂ ಈಗ ನಿನ್ನ ಬಳಿಗೆ ಕಳುಹಿಸುತ್ತಿದ್ದೇನೆ. ಶುಭಸಂದೇಶಕ್ಕೋಸ್ಕರ ನಾನು ಸೆರೆಮನೆಯಲ್ಲಿರುವಾಗ ನಿನ್ನ ಬದಲಾಗಿ ನನಗೆ ಸಹಾಯಮಾಡಲು ಇವನನ್ನು ಇಲ್ಲಿಯೇ ಉಳಿಸಿಕೊಳ್ಳಲು ಇಷ್ಟವಿತ್ತು. ಆದರೆ ನನಗೆ ಸಹಾಯವಾಗಲೆಂದು ನಿನ್ನನ್ನು ಖಡ್ಡಾಯಪಡಿಸಲು ನನಗಂತೂ ಇಷ್ಟವಿಲ್ಲ. ನೀನಾಗಿಯೇ ನಿನ್ನ ಸ್ವಂತ ಇಚ್ಛೆಯಿಂದ ಹಾಗೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ಆದ್ದರಿಂದ ನಿನ್ನ ಒಪ್ಪಿಗೆಯಿಲ್ಲದೆ ನಾನು ಏನನ್ನೂ ಮಾಡುತ್ತಿಲ್ಲ. ಸ್ವಲ್ಪಕಾಲ ಒನೇಸಿಮನು ನಿನ್ನಿಂದ ದೂರವಿದ್ದುದಕ್ಕೆ ಕಾರಣ ಆತನು ಸದಾಕಾಲ ನಿನ್ನವನಾಗುವುದಕ್ಕೋ ಏನೋ. ಈಗ ಅವನು ನಿನ್ನ ಬಳಿಗೆ ಬರುತ್ತಿರುವುದು ಕೇವಲ ಗುಲಾಮನಂತೆ ಅಲ್ಲ. ಅದಕ್ಕಿಂತಲೂ ಬಹಳ ಮೇಲಾದವನಂತೆ, ಕ್ರಿಸ್ತಯೇಸುವಿನಲ್ಲಿ ಪ್ರಿಯ ಸಹೋದರನಂತೆ, ಅವನೆಂದರೆ ನನಗೆಷ್ಟೋ ಪ್ರೀತಿ. ಹಾಗಾದರೆ ನಿನ್ನ ಸೇವಕನೂ ನಮ್ಮ ಪ್ರಭುವಿನಲ್ಲಿ ನಿನ್ನ ಪ್ರಿಯ ಸಹೋದರನೂ ಆಗಿರುವ ಅವನ ಬಗ್ಗೆ ನಿನಗೆ ಮತ್ತಷ್ಟು ಪ್ರೀತಿ ಇರಬೇಕಲ್ಲವೇ? ಆದ್ದರಿಂದ ಕ್ರಿಸ್ತಯೇಸುವಿನಲ್ಲಿ ನಿನಗೂ ನನಗೂ ಅನ್ಯೋನ್ಯತೆ ಇದೆಯೆಂದು ನೀನು ಪರಿಗಣಿಸುವುದಾದರೆ ನನ್ನನ್ನು ಹೇಗೆ ಸ್ವಾಗತಿಸುತ್ತಿದ್ದೆಯೋ ಹಾಗೆಯೇ ಇವನನ್ನು ಸ್ವಾಗತಿಸು. ಇವನು ನಿನಗೇನಾದರೂ ಅನ್ಯಾಯ ಮಾಡಿದ್ದಾದರೆ, ಅಥವಾ ಇವನಿಂದ ನಿನಗೇನಾದರೂ ಸಲ್ಲಬೇಕಾದ ಬಾಕಿಯಿದ್ದರೆ, ಅದೆಲ್ಲವನ್ನೂ ನನ್ನ ಲೆಕ್ಕಕ್ಕೆ ಹಾಕು. ಅದನ್ನು ಪೌಲನೆಂಬ ನಾನೇ ಕೊಟ್ಟು ತೀರಿಸುತ್ತೇನೆ ಎಂದು ನನ್ನ ಹಸ್ತಾಕ್ಷರದಲ್ಲೇ ಬರೆದುಕೊಡುತ್ತಿದ್ದೇನೆ. ಆದರೆ ಈಗ ನೀನು ಏನಾಗಿದ್ದೀಯೋ ಅದು ನನ್ನಿಂದಲೇ. ಹೀಗೆ ನೀನೇ ನನಗೆ ಸಾಲಗಾರನಾಗಿದ್ದೀ ಎಂದು ನಾನು ಹೇಳಬೇಕಾಗಿಲ್ಲ. ಹೌದು, ಪ್ರಿಯ ಸಹೋದರನೇ, ಪ್ರಭುವಿನ ಹೆಸರಿನಲ್ಲಿ ಇದೊಂದು ಉಪಕಾರವನ್ನು ನನಗೆ ಮಾಡಿಕೊಡು; ಕ್ರಿಸ್ತಯೇಸುವಿನಲ್ಲಿ ನನ್ನ ಹೃದಯ ಆನಂದಿಸುವಂತೆ ಮಾಡು.

ಕೀರ್ತನೆ: 146:7, 8-9, 9-10

ಶ್ಲೋಕ: ಇಸ್ರಯೇಲ ಕುಲದೇವರು ಯಾರಿಗೆ ಉದ್ದಾರಕನೂ ಅವನೇ ಧನ್ಯನು 

1.  ಕೊಟ್ಟ ವಾಗ್ದಾನಗಳನು ತಪ್ಪದೆ ನೆರವೇರಿಸುವವ ಆತನೇ|
ದೊರಕಿಸುವನು ನ್ಯಾಯ ದಲಿತರಿಗೆ||
ಒದಗಿಸುವನು ಆಹಾರ ಹಸಿದವರಿಗೆ|
ನೀಡುವನು ಬಿಡುಗಡೆ ಬಂಧಿತರಿಗೆ||
ಶ್ಲೋಕ

2.  ಕಣ್ಣನ್ನೀಯುವನು ಪ್ರಭು ಕುರುಡರಿಗೆ|
ಉದ್ಧಾರಕನು ಆ ಪ್ರಭು ಕುಗ್ಗಿದವರಿಗೆ|
ಆತನ ಒಲವಿರುವುದು ಸಾಧು ಸಜ್ಜನರಿಗೆ||
ರಕ್ಷಿಸುವನು ಪ್ರಭು ಪರದೇಶಿಗಳನು|
ಆದರಿಸುವನು ಅನಾಥರನು, ವಿಧವೆಯರನು||
ಶ್ಲೋಕ

3.  ನಿರ್ಮೂಲ ಮಾಡುವನು ದುರ್ಜನರ ಮಾರ್ಗವನು|
ಪ್ರಭುವೇ ಅರಸನು ಸದಾಕಾಲಕು|
ಸಿಯೋನ್, ನಿನ್ನ ದೇವನಾಳ್ವನು ತಲತಲಾಂತರಕು||
ಶ್ಲೋಕ


ಘೋಷಣೆ
(ಕೀರ್ತನೆ 27: 11)

ಅಲ್ಲೆಲೂಯ, ಅಲ್ಲೆಲೂಯ.
ಬೋಧಿಸೆನಗೆ  ಪ್ರಭೂ, ನಿನ್ನ  ಮಾರ್ಗವನು || ಶತ್ರುರಹಿತ  ಹಾದಿಯಲಿ ನಡೆಸು  ಎನ್ನನು ||
ಅಲ್ಲೆಲೂಯ.

ಶುಭಸಂದೇಶ: ಲೂಕ 17:20-25


ದೇವರ ಸಾಮ್ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಕೇಳಿದಾಗ ಯೇಸುಸ್ವಾಮಿ ಪ್ರತ್ಯುತ್ತರವಾಗಿ, “ದೇವರ ಸಾಮ್ರಾಜ್ಯವು ಕಣ್ಣುಗಳಿಗೆ ಕಾಣಿಸುವಂತೆ ಬರುವುದಿಲ್ಲ. ‘ಇಗೋ, ಅದು ಇಲ್ಲಿದೆ ಅಥವಾ ಅಲ್ಲಿದೆ,’ ಎಂದು ಹೇಳುವಂತಿಲ್ಲ. ಏಕೆಂದರೆ, ದೇವರ ಸಾಮ್ರಾಜ್ಯವು ನಿಮ್ಮೊಳಗೇ ಇದೆ,” ಎಂದರು.  ಅನಂತರ ಶಿಷ್ಯರನ್ನು ಉದ್ದೇಶಿಸಿ, “ಕಾಲ ಒಂದು ಬರುವುದು, ಆಗ ನರಪುತ್ರನೊಂದಿಗೆ ಒಂದು ದಿನವನ್ನಾದರೂ ಕಳೆಯಲು ಹಂಬಲಿಸುವಿರಿ. ಆದರೆ ನಿಮಗದು ಲಭಿಸದು. ‘ಇಗೋ, ಇಲ್ಲಿದ್ದಾನೆ; ಅಗೋ ಅಲ್ಲಿದ್ದಾನೆ,’ ಎಂದು ಜನರು ಸುದ್ದಿ ಎಬ್ಬಿಸುವರು. ಅದನ್ನು ನೀವು ನೋಡಲು ಹೋಗಬೇಡಿ; ಅಂಥವರನ್ನು ಹಿಂಬಾಲಿಸಲೂ ಬೇಡಿ. ಆಕಾಶದ ಒಂದು ದಿಕ್ಕಿನಿಂದ ಇನ್ನೊಂದು ದಿಕ್ಕಿನವರೆಗೆ ಮಿನುಗಿ ಹೊಳೆಯುವ ಮಿಂಚಿನಂತೆ ನರಪುತ್ರನು ತಾನು ಬರುವ ಕಾಲದಲ್ಲಿ ಕಾಣಿಸಿಕೊಳ್ಳುವನು. ಆದರೆ ಅದಕ್ಕೆ ಮೊದಲು ಆತನು ತೀವ್ರ ಯಾತನೆಯನ್ನು ಅನುಭವಿಸಿ ಈ ಪೀಳಿಗೆಯಿಂದ ತಿರಸ್ಕೃತನಾಗಬೇಕು."ಎಂದರು. 

Tuesday, November 10, 2026

11.11.2026 - ಎದ್ದು ಹೋಗು; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ

ಮೊದಲನೇ ವಾಚನ: ಪೌಲನು ತೀತನಿಗೆ ಬರೆದ ಪತ್ರದಿಂದ 3: 1-7


ಪ್ರಿಯನೇ, ಆಳುವವರಿಗೂ ಅಧಿಕಾರಿಗಳಿಗೂ ಕ್ರೈಸ್ತ ವಿಶ್ವಾಸಿಗಳು ವಿಧೇಯರಾಗಿ ನಡೆದು ಕೊಳ್ಳಬೇಕೆಂದು ಜ್ಞಾಪಕ ಪಡಿಸು. ಎಲ್ಲಾ ಸತ್ಕಾರ್ಯಗಳನ್ನು ಕೈಗೊಳ್ಳಲು ಅವರು ಸಿದ್ಧರಿರಬೇಕು.  ಅವರು ಯಾರನ್ನೂ ದೂಷಿಸದೆ, ಯಾರೊಡನೆಯೂ ಜಗಳವಾಡದೆ, ಸಾಧು ಗುಣದಿಂದ ಎಲ್ಲರೊಡನೆ ಸೌಜನ್ಯದಿಂದ ನಡೆದುಕೊಳ್ಳಲಿ.  ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿ ಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು. ಹೀಗಿರುವಾಗ, ಜಗದ್ರಕ್ಷಕರಾದ ದೇವರ ದಯೆಯೂ ಅವರ ಜನಪ್ರೇಮವೂ ಪ್ರಕಟವಾದವು.  ಆಗ ಅವರೇ ನಮ್ಮನ್ನು ಉದ್ಧರಿಸಿದರು.  ನಮ್ಮ ಸ್ವಂತ ಪುಣ್ಯ ಕಾರ್ಯಗಳು ನಮಗೆ ಈ ಉದ್ಧಾರವನ್ನು ತರಲಿಲ್ಲ. ಪುನರ್ಜನ್ಮವನ್ನು ಸೂಚಿಸುವ ಸ್ನಾನದಿಂದಲೂ  ನೂತನ ಜೀವವನ್ನೀಯುವ ಪವಿತ್ರಾತ್ಮರಿಂದಲೂ  ಅವರೇ ನಮ್ಮನ್ನು ಕರುಣೆಯಿಂದ ಉದ್ಧಾರ ಮಾಡಿದರು. ಪವಿತ್ರಾತ್ಮರನ್ನು ನಮ್ಮ ಉದ್ಧಾರಕ ಯೇಸು ಕಿಸ್ತರ ಮುಖಾಂತರ ದೇವರು ನಮಗೆ ಧಾರಾಳವಾಗಿ ಅನುಗ್ರಹಿಸಿದ್ದಾರೆ. ಹೀಗೆ ದೈವಾನುಗ್ರಹದಿಂದ ನಾವು ದೇವರೊಡನೆ ಸತ್ಸಂಬಂಧವನ್ನು ಹೊಂದಿದೆವು. ನಿತ್ಯ ಜೀವದ ಭರವಸೆಯನ್ನು ಪಡೆದು ಆ ಜೀವಕ್ಕೆ ಬಾಧ್ಯಸ್ಥರಾದೆವು.  ಇದು ಸತ್ಯವಾದ ಮಾತು.


ಕೀರ್ತನೆ: (ಕೀರ್ತನೆ 25: 4)

ಶ್ಲೋಕ:  ಪ್ರಭು ಕುರಿಗಾಹಿಯಾಗಿರಲು ನನಗೆ ಕುಂದುಕೊರತೆಗಳೆಲ್ಲಿಯವು ಎನಗೆ?

1.  ಪ್ರಭು ಕುರಿಗಾಹಿಯಾಗಿರಲು ನನಗೆ|
ಕುಂದುಕೊರತೆಗಳೆಲ್ಲಿಯವು ಎನಗೆ?||
ಹಸಿರುಗಾವಲುಗಳಲೆನ್ನ ತಂಗಿಸುವನು|
ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು|
ನನ್ನ ಪ್ರಾಣವನಾತ ಪುನಶ್ಚೆತನಗೊಳಿಸುವನು||
ಶ್ಲೋಕ

2.  ತನ್ನ ನಾಮ ನಿಮಿತ್ತ ಸನ್ಮಾರ್ಗದಲ್ಲಿ ನಡೆಸುವನು|
ಎನಗೆ ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ||
ನಿನ್ನ ಕುರಿಗೋಲು, ಊರುಗೋಲು, ಧೈರ್ಯವನ್ನು ತರುವುದೆನಗೆ|
ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ||
ಶ್ಲೋಕ

3.  ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಣುಂದೆಯೇ ನನಗೌತಣವನು|
ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು||
ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ|
ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ||
ಶ್ಲೋಕ

ಘೋಷಣೆ
(ಕೀರ್ತನೆ 25: 4)

ಅಲ್ಲೆಲೂಯ, ಅಲ್ಲೆಲೂಯ.
ನಿನ್ನ ಮಾರ್ಗವನು ಪ್ರಭೂ, ನನಗೆ ತೋರಿಸು | ನೀನೊಪ್ಪುವ ಪಥದಲಿ ನಾ ನಡೆಯ ಕಲಿಸು ||
ಅಲ್ಲೆಲೂಯ.

ಶುಭಸಂದೇಶ: ಲೂಕ 17:11-19

ಯೇಸುಸ್ವಾಮಿ ಜೆರುಸಲೇಮಿಗೆ ಪ್ರಯಾಣ ಮಾಡುತ್ತಾ ಸಮಾರಿಯ ಹಾಗೂ ಗಲಿಲೇಯ ಗಡಿಗಳ ನಡುವೆ ಹಾದು ಹೋಗುತ್ತಿದ್ದರು. ಒಂದು ಗ್ರಾಮವನ್ನು ಸಮೀಪಿಸಿದಾಗ ಕುಷ್ಟ ರೋಗದಿಂದ ನರಳುತ್ತಿದ್ದ ಹತ್ತು ಮಂದಿ ಅವರಿಗೆ ಎದುರಾಗಿ ಬಂದರು. ದೂರದಲ್ಲೇ ನಿಂತು, "ಯೇಸುವೇ, ಗುರುವೇ, ನಮ್ಮ ಮೇಲೆ ಕರುಣೆಯಿಡಿ," ಎಂದು ಕೂಗಿ ಕೇಳಿಕೊಂಡರು, ಯೇಸು ಅವರನ್ನು ನೋಡಿ, "ನೀವು ಯಾಜಕರ ಬಳಿಗೆ ಹೋಗಿರಿ. ಅವರು ನಿಮ್ಮನ್ನು ಪರೀಕ್ಷಿಸಲಿ," ಎಂದರು. ಅಂತೆಯೇ, ಅವರು ದಾರಿಯಲ್ಲಿ ಹೋಗುತ್ತಿರುವಾಗಲೇ ಗುಣ ಹೊಂದಿದರು. ಅವರಲ್ಲಿ ಒಬ್ಬನು ತಾನು ಗುಣಹೊಂದಿದ್ದನ್ನು ಕಂಡು, ಹರ್ಷೋದ್ಗಾರದಿಂದ ದೇವರನ್ನು ಸ್ತುತಿಸುತ್ತಾ ಹಿಂದಿರುಗಿ ಬಂದನು. ಯೇಸುವಿನ ಪಾದಕ್ಕೆ ಸಾಷ್ಟಾಂಗವೆರಗಿ ಕೃತಜ್ಞತೆಯನ್ನು ಸಲ್ಲಿಸಿದನು. ಇವನೋ ಸಮಾರಿಯದವನು! ಆಗ ಯೇಸು, "ಹತ್ತುಮಂದಿ ಗುಣ ಹೊಂದಿದರಲ್ಲವೆ? ಮಿಕ್ಕ ಒಂಭತ್ತು ಮಂದಿ ಎಲ್ಲಿ?  ದೇವರನ್ನು ಸ್ತುತಿಸುವುದಕ್ಕೆ ಈ ಹೊರನಾಡಿನವನ ಹೊರತು ಬೇರಾರೂ ಬರಲಿಲ್ಲವೇ?" ಎಂದರು. ಆನಂತರ ಆ ಸಮಾರಿಯದವನಿಗೆ, "ಎದ್ದು ಹೋಗು; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ ," ಎಂದು ಹೇಳಿದರು.

Monday, November 9, 2026

10.11.2026 - ನಾವು ಕೇವಲ ಆಳುಗಳು; ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ,’ ಎಂದುಕೊಳ್ಳಿರಿ

ಮೊದಲನೇ ವಾಚನ: ತೀತನಿಗೆ 2: 1-8, 11-14


ಪ್ರಿಯನೇ, ನೀನಾದರೋ ಸದ್ಬೋಧನೆಗೆ ತಕ್ಕಂತೆ ಉಪದೇಶಮಾಡು. ಮದ್ಯಾಸಕ್ತಿ ಇಲ್ಲದೆಯೂ ಗೌರವಾಸಕ್ತರಾಗಿಯೂ ಆತ್ಮ ಸಂಯಮಿಗಳಾಗಿಯೂ ಇರಬೇಕೆಂದು ವೃದ್ಧರಿಗೆ ಬೋಧಿಸು.  ವಿಶ್ವಾಸ, ಪ್ರೀತಿ ಮತ್ತು ತಾಳ್ಮೆ ಅವರ ಮುಖ್ಯ ಗುಣಗಳಾಗಿರಬೇಕು. ಅಂತೆಯೇ, ವೃದ್ಧ ಸ್ತ್ರೀಯರು ಸಭ್ಯರಾಗಿ ವರ್ತಿಸಬೇಕು.  ಅವರು ಚಾಡಿ ಹೇಳಬಾರದು; ಮದ್ಯಾಸಕ್ತರಾಗಿರಬಾರದು; ಸದ್ಬೋಧಕಿಯರಾಗಿರಬೇಕೆಂದು ವಿಧಿಸು. ಅವರು ನವ ಗೃಹಿಣಿಯರಿಗೆ, ತಮ್ಮ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವಂತೆ ಬುದ್ಧಿ ಹೇಳಬೇಕು. ಗೃಹಿಣಿಯರು, ವಿವೇಕ ಬುದ್ಧಿಯುಳ್ಳವರು, ಪತಿವ್ರತೆಯರು, ಗೃಹಕೃತ್ಯಗಳನ್ನು ಗಮನಿಸುವವರು, ಸುಶೀಲೆಯರು, ಗಂಡಂದಿರಿಗೆ ವಿಧೇಯರು ಆಗಿ ಬಾಳುವುದನ್ನು ವೃದ್ಧ ಸ್ತ್ರೀಯರಿಂದ ಕಲಿತುಕೊಳ್ಳಲಿ. ಹೀಗೆ, ದೇವರ ವಾಕ್ಯಕ್ಕೆ ಯಾವ ಅಪವಾದವೂ ಬಾರದಂತೆ ಅವರು ನಡೆದುಕೊಳ್ಳಲಿ. ಹಾಗೆಯೇ, ಯುವಕರು ಎಲ್ಲ ವಿಷಯಗಳಲ್ಲೂ ಜಿತೇಂದ್ರಿಯರಾಗಿರಬೇಕೆಂದು ನೀನು ಎಚ್ಚರಿಸು. ಸತ್ಕಾರ್ಯಗಳನ್ನು ಮಾಡುವುದರಲ್ಲಿ ನೀನೇ ಮಾದರಿಯಾಗಿರಬೇಕು ಎಂಬುದನ್ನು ಮರೆಯಬೇಡ.  ನಿನ್ನ ಬೋಧನೆ ಯಥಾರ್ಥವೂ ಗಂಭೀರವೂ ಕಳಂಕರಹಿತವೂ ಆಗಿರಲಿ. ಆಗ ನಮ್ಮ ವಿರೋಧಿಗಳು ನಮ್ಮಲ್ಲಿ ತಪ್ಪು ಕಂಡು ಹಿಡಿಯಲಾಗದೆ ತಾವೇ ಅಪಮಾನಿತರಾಗುತ್ತಾರೆ. ಎಲ್ಲಾ ಮಾನವರ ಜೀವೋದ್ಧಾರಕ್ಕಾಗಿಯೇ ದೇವರ ಅನುಗ್ರಹವು ಪ್ರಕಟವಾಗಿದೆ. ನಾವು ಭಕ್ತಿಹೀನ ನಡತೆಯನ್ನೂ ಪ್ರಾಪಂಚಿಕ ವ್ಯಾಮೋಹಗಳನ್ನೂ ವಿಸರ್ಜಿಸಿ, ಈ ಲೋಕದಲ್ಲಿ ವಿವೇಕಿಗಳಾಗಿಯೂ ಪ್ರಾಮಾಣಿಕರಾಗಿಯೂ ಭಕ್ತರಾಗಿಯೂ ಜೀವಿಸಬೇಕೆಂದು ಅದು ನಮಗೆ ಬೋಧಿಸುತ್ತದೆ. ಅಲ್ಲದೆ, ಮಹೋನ್ನತ ದೇವರು ಮತ್ತು ನಮ್ಮ ಉದ್ಧಾರಕ ಯೇಸುಕ್ರಿಸ್ತರು ಮಹಿಮಾ ರೂಪದಲ್ಲಿ ನಮಗೆ ಪ್ರತ್ಯಕ್ಷವಾಗುವ ಸೌಭಾಗ್ಯವನ್ನು ನಾವು ಎದುರು ನೋಡಬೇಕೆಂದು ಅದು ಕಲಿಸುತ್ತದೆ. ಯೇಸು ಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು.  ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟರು.

ಕೀರ್ತನೆ  37: 3-4, 18, 23, 27, 29. v. 39
ಶ್ಲೋಕ:  ಸಜ್ಜನರ  ಜೀವೋದ್ಧಾರ  ಪ್ರಭುವಿನಿಂದ.

1.  ಒಳಿತನು ಮಾಡು ಪ್ರಭುವಿನಲಿ ಭರವಸೆಯಿಟ್ಟು|
ಸುರಕ್ಷಿತವಾಗಿ ಬಾಳು ಸಿರಿನಾಡಿನಲ್ಲಿದ್ದು||
ಪ್ರಭುವಿನಿಂದಲೇ ಬಯಸು ನಿನ್ನಾಂದವನು|
ನೆರವೇರಿಸುವನಾತ ನಿನ್ನ ಮನದಾಸೆಯನು||
ಶ್ಲೋಕ

2.  ಸಜ್ಜನರಿಗೆ ಸಿಗುವ ಸೊತ್ತು ಶಾಶ್ವತ|
ಪ್ರಭುವಿಗೆ ಗೊತ್ತು ಅವರ ಬಾಳಿನಂತ್ಯ||
ಪ್ರಭುವಿಗೆ ಪ್ರಿಯವು ಮಾನವನ ಪ್ರವರ್ತನ|
ಅವನ ನಡತೆಗೆ ಆತನೇ ಮಾರ್ಗದರ್ಶನ||
ಶ್ಲೋಕ

3.  ಕೆಟ್ಟದನು ಬಿಡು, ಒಳ್ಳೆಯದನು ಮಾಡು|
ಸಿರಿನಾಡಿನಲಿ ಚಿರಕಾಲ ಬಾಳು||
ಸಜ್ಜನರು ಸಿರಿನಾಡಿಗೆ ಬಾಧ್ಯಸ್ಥರು|
ಅಲ್ಲವರು ಶಾಶ್ವತವಾಗಿ ಬಾಳುವರು||
ಶ್ಲೋಕ

ಘೋಷಣೆ:-   ಕೀರ್ತನೆ 19: 8

ಅಲ್ಲೆಲೂಯ, ಅಲ್ಲೆಲೂಯ
ಪ್ರಭುವಿನ  ನಿಯಮ  ನೀತಿಬದ್ಧ; ಮನಸ್ಸಿಗದು ಗ್ರಹಿಕೆ| ಪ್ರಭುವಿನ  ಕಟ್ಟಳೆ  ಪರಿಶುದ್ದ; ಕಣ್ಣಿಗದು  ದೀವಿಗೆ || ಅಲ್ಲೆಲೂಯ.

ಶುಭಸಂದೇಶ: ಲೂಕ 17: 7-10


“ನಿಮಗೆ ಒಬ್ಬ ಆಳಿದ್ದಾನೆಂದು ಭಾವಿಸೋಣ. ಅವನು ಹೊಲ ಉತ್ತೋ, ಕುರಿ ಮೇಯಿಸಿಯೋ ಮನೆಗೆ ಬರುತ್ತಾನೆ. ಬಂದಾಕ್ಷಣವೇ, ‘ಬಾ, ನನ್ನೊಂದಿಗೆ ಊಟಮಾಡು,’ ಎಂದು ನಿಮ್ಮಲ್ಲಿ ಯಾರಾದರೂ ಅವನಿಗೆ ಹೇಳುತ್ತಾರೆಯೇ? ಇಲ್ಲ. ಅದಕ್ಕೆ ಬದಲಾಗಿ ‘ಊಟ ಸಿದ್ಧಮಾಡು; ನಾನು ಊಟಮಾಡಿ ಮುಗಿಸುವ ತನಕ ನಡುಕಟ್ಟಿಕೊಂಡು ನನಗೆ ಉಪಚಾರಮಾಡು. ಅನಂತರ ನೀನು ಊಟಮಾಡುವೆಯಂತೆ,’ ಎಂದು ಹೇಳುತ್ತಾರಲ್ಲವೇ? ತಮ್ಮ ಆಜ್ಞೆಯ ಪ್ರಕಾರ ನಡೆದುಕೊಂಡ ಆಳಿಗೆ ಅವರು ಕೃತಜ್ಞತೆ ಸಲ್ಲಿಸುತ್ತಾರೆಯೇ? ಇಲ್ಲ. ಹಾಗೆಯೇ ನೀವು ಸಹ. ನಿಮಗೆ ವಿಧಿಸಿದ್ದನ್ನು ಮಾಡಿ ಮುಗಿಸಿದ ನಂತರ, ‘ನಾವು ಕೇವಲ ಆಳುಗಳು; ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ,’ ಎಂದುಕೊಳ್ಳಿರಿ,” ಎಂದರು.

09.11.2026 - ಈ ದೇವಾಲಯವನ್ನು ಕೆಡವಿಬಿಡಿ, ಮೂರು ದಿನದಲ್ಲಿ ಅದನ್ನು ಪುನಃ ಎಬ್ಬಿಸುವೆನು

 ಮೊದಲನೇ ವಾಚನ: ಯೆಜೆಕಿಯೇಲಾ 47:1-2, 8-9, 12











ಆಮೇಲೆ ಆ ಪುರುಷ ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದು ತಂದನು: ಇಗೋ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವದಕಡೆಗೆ ಹರಿಯುತ್ತಿತ್ತು. (ದೇವಸ್ಥಾನ ಪೂರ್ವಾಭಿಮುಖವಾಗಿತ್ತು). ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಬಲಿಪೀಠದ ದಕ್ಷಿಣದಲ್ಲಿ ಹರಿಯುತ್ತಿತ್ತು. ಆಗ ಅವನು ನನ್ನನ್ನು ಉತ್ತರ ಹೆಬ್ಬಾಗಿಲಿನಿಂದ ದೇವಾಲಯದ ಹೊರಗಿನ ಮಾರ್ಗವಾಗಿ ಸುತ್ತಿಸಿಕೊಂಡು ಪೂರ್ವದ ಹೆಬ್ಬಾಗಿಲಿಗೆ ಕರೆದುತಂದನು. ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲಮೆಲ್ಲನೆ ಹರಿಯುವ ನೀರು ಕಾಣಿಸಿತು. ಆಗ ಅವನು ನನಗೆ ಹೀಗೆ ಹೇಳಿದನು: “ಈ ಪ್ರವಾಹ ಪೂರ್ವಪ್ರಾಂತ್ಯಕ್ಕೆ ಹೊರಟು ಅರಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು; ದೇವಸ್ಥಾನದಿಂದ ಹೊರಟ ಪ್ರವಾಹವು ಲವಣಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು. ಈ ತೊರೆ ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪು ಗುಂಪಾಗಿ ಚಲಿಸುವ ಸಕಲವಿಧ ಜಲ ಜಂತುಗಳು ಬದುಕಿ ಬಾಳುವುವು; ವಿೂನುಗಳು ತಂಡೋಪ ತಂಡವಾಗಿರುವುವು. ಈ ನೀರು ಸಮುದ್ರಕ್ಕೆ ಬೀಳಲು ಆ ನೀರೂ ಸಿಹಿಯಾಗುವುದು; ಈ ತೊರೆ ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವುದು. ತೊರೆಯ ಎರಡು ದಡಗಳಲ್ಲಿಯೂ ಸಕಲ ಫಲವೃಕ್ಷಗಳು ಬೆಳೆಯುವುವು. ಅವುಗಳ ಎಲೆ ಬಾಡದು, ಹಣ್ಣು ತೀರದು. ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳು ತಿಂಗಳಲ್ಲಿಯೂ ಹೊಸ ಹೊಸ ಫಲವನ್ನು ಕೊಡುತ್ತಲಿರುವುವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಅನುಕೂಲಿಸುವುವು.”

ಕೀರ್ತನೆ: 46:3,4, 5-6, 8, 11
ಶ್ಲೋಕ: ನದಿಯೊಂದು ಆನಂದಗೊಳಿಸುವುದು ದೇವನಗರವನು ಪುನೀತಗೊಳಿಸುವುದು ಪರಾತ್ಪರನಾ ನಿವಾಸವನು 

ಎರಡನೇ ವಾಚನ: 1 ಕೊರಿಂಥಿಯಾಯರಿಗೆ 3:9-11, 16-17


ಸಹೋದರರೇ, ನಾವು ದೇವರ ಸಹಕಾರ್ಮಿಕರು. ನೀವು ದೇವರೆ ಸಾಗುವಳಿ ಮಾಡುವ ಹೊಲ; ಅವರೆ ನಿರ್ಮಿಸುತ್ತಿರುವ ಮಂದಿರ. ದೇವರು ನನಗಿತ್ತ ವರದಾನಗಳಿಗೆ ಅನುಸಾರವಾಗಿ ನಾನು ಚತುರ ಶಿಲ್ಪಿಯಂತೆ ಅಸ್ತಿವಾರ ಹಾಕಿದೆ. ಇನ್ನೊಬ್ಬನು ಅದರ ಮೇಲೆ ಕಟ್ಟುತ್ತಿದ್ದಾನೆ. ಆದರೆ ಕಟ್ಟುವ ಪ್ರತಿಯೊಬ್ಬನು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಲಿ. ಈಗಾಗಲೇ ಅಸ್ತಿವಾರ ಹಾಕಲಾಗಿದೆ. ಯೇಸುಕ್ರಿಸ್ತರೇ ಆ ಅಸ್ತಿವಾರ. ಇದಲ್ಲದೆ, ಬೇರೆ ಅಸ್ತಿವಾರವನ್ನು ಯಾರೂ ಹಾಕಲಾಗದು. ನೀವು ದೇವರ ಆಲಯವಾಗಿದ್ದೀರಿ. ದೇವರ ಆತ್ಮವು ನಿಮ್ಮಲ್ಲಿ ವಾಸಿಸುತ್ತದೆಂದು ನಿಮಗೆ ಚೆನ್ನಾಗಿ ತಿಳಿದಿದೆ. ಯಾವನಾದರೂ ದೇವಾಲಯವನ್ನು ನಾಶಮಾಡಿದರೆ ದೇವರು ಅವನನ್ನು ನಾಶಮಾಡುತ್ತಾರೆ. ದೇವರ ಆಲಯವು ಪವಿತ್ರವಾದುದು. ನೀವೇ ಆ ಆಲಯ.

ಶುಭಸಂದೇಶ: ಯೋವಾನ್ನ 2:13-22


















ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿದ್ದುದರಿಂದ ಯೇಸುಸ್ವಾಮಿ ಜೆರುಸಲೇಮಿಗೆ ತೆರಳಿದರು. ಅಲ್ಲಿಯ ಮಹಾದೇವಾಲಯದಲ್ಲಿ ದನ, ಕುರಿ ಮತ್ತು ಪಾರಿವಾಳಗಳನ್ನು ಮಾರುವವರು ಮತ್ತು ನಾಣ್ಯವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿದ್ದರು. ಅದನ್ನು ಕಂಡ ಯೇಸು, ಹಗ್ಗವನ್ನು ಚಾವಟಿಯಂತೆ ಹೆಣೆದು ಅದರಿಂದ ಅವರನ್ನೆಲ್ಲಾ ದೇವಾಲಯದಿಂದ ಹೊರಗಟ್ಟಿದರು. ದನಕುರಿಗಳನ್ನು ಓಡಿಸಿದರು. ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಕೆಡವಿ, ಚಿಲ್ಲರೆ ಹಣವನ್ನು ಚೆಲ್ಲಿದರು. ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವನ್ನು ಇಲ್ಲಿಂದ ತೆಗೆದುಕೊಂಡು ಹೊರಡಿ. ನನ್ನ ಪಿತನ ಆಲಯವನ್ನು ಸಂತೆಯನ್ನಾಗಿ ಮಾಡಬೇಡಿ,” ಎಂದು ಹೇಳಿದರು. ‘ನಿನ್ನ ಆಲಯದ ಮೇಲಿನ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,’ ಎಂದು ಪವಿತ್ರಗ್ರಂಥದಲ್ಲೇ ಬರೆದಿರುವ ವಾಕ್ಯವು ಶಿಷ್ಯರಿಗೆ ಆಗ ನೆನಪಾಯಿತು. ಯೆಹೂದ್ಯರು, “ಇಷ್ಟೆಲ್ಲಾ ಮಾಡಲು ನಿನಗೆ ಅಧಿಕಾರವಿದೆ ಎಂದು ರುಜುವಾತು ಪಡಿಸುವುದಕ್ಕೆ ಯಾವ ಪವಾಡವನ್ನು ಮಾಡಿ ತೋರಿಸಬಲ್ಲೆ?” ಎಂದು ಯೇಸುವನ್ನು ಪ್ರಶ್ನಿಸಿದರು. ಅದಕ್ಕೆ ಯೇಸು, “ಈ ದೇವಾಲಯವನ್ನು ಕೆಡವಿಬಿಡಿ, ಮೂರು ದಿನದಲ್ಲಿ ಅದನ್ನು ಪುನಃ ಎಬ್ಬಿಸುವೆನು,” ಎಂದು ಉತ್ತರಕೊಟ್ಟರು. ಚಕಿತರಾದ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟಲು ನಲವತ್ತಾರು ವರ್ಷಗಳು ಹಿಡಿದಿವೆ. ನೀನು ಮೂರು ದಿನಗಳಲ್ಲೇ ಅದನ್ನು ಎಬ್ಬಿಸಬಲ್ಲೆಯಾ?” ಎಂದು ಕೇಳಿದರು. ಯೇಸು ಹೇಳಿದ್ದು ತಮ್ಮ ದೇಹವೆಂಬ ದೇಗುಲವನ್ನು ಕುರಿತು. ಅವರು ಸತ್ತು ಪುನರುತ್ಥಾನ ಹೊಂದಿದ ಬಳಿಕ ಶಿಷ್ಯರು ಅವರ ಈ ಮಾತುಗಳನ್ನು ಸ್ಮರಿಸಿಕೊಂಡರು. ಪವಿತ್ರಗ್ರಂಥದಲ್ಲೂ ಯೇಸುವಿನ ಮಾತಿನಲ್ಲೂ ಅವರಿಗೆ ಆಗ ವಿಶ್ವಾಸ ಹುಟ್ಟಿತು.

Saturday, November 7, 2026

08.11.2026 - ಜಾಗೃತರಾಗಿರಿ ! ಏಕೆಂದರೆ ಆ ದಿನವಾಗಲಿ, ಆ ಗಳಿಗೆಯಾಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು.


 ಮೊದಲನೆಯ  ವಾಚನ : ಸುಜ್ಞಾನ  ಗ್ರಂಥ 6:12-16


ಸುಜ್ಞಾನವೆಂಬಾಕೆ  ತೇಜೋಪುಂಜಳಾಗಿ  ಇರುವಳು,  ಅವಳ  ಕಾಂತಿ  ಕುಂದದು.  ಪ್ರೀತಿಸುವವರಿಗೆ  ಸಹಜವಾಗಿ  ಗೋಚರ  ಆಗುವಳು,  ಅರಸುವವರಿಗೆ  ಸಿಕ್ಕುವಳು.  ತನ್ನನ್ನು  ತಿಳಿಯಲಪೇಕ್ಷಿಸುವವರ  ಹತ್ತಿರಕ್ಕೆ,  ತಾನೇ  ಬಂದು  ತಿಳಿಯಪಡಿಸಿಕೊಳ್ಳುತ್ತಾಳೆ.  ಅವಳನ್ನು  ಹುಡುಕಲು  ನಸುಕಿನಲೇ  ಏಳುವ  ಪರಿಶ್ರಮ  ಬೇಡ,  ಕಾರಣ  ತನ್ನ  ಬಾಗಿಲಲೇ  ಅವಳು  ಕುಳಿತಿರುವುದನ್ನೆ  ಕಾಣುವನಾತ.  ಅವಳ  ಮೇಲೆ  ನಿಗವಿಟ್ಟಿರುವವನು  ಬುದ್ದಿ  ಸಂಪನ್ನನಾಗುವನು,  ಅವಳನ್ನೆ  ಕಾಯುತ್ತಿರುವನು   ಚಿಂತೆಯಿಂದ  ಬೇಗ  ಮುಕ್ತನಾಗುವನು.  ಸುಜ್ಞಾನ  ತನಗೆ  ಯೋಗ್ಯರಾದವರನು  ಅರಸುತ್ತ  ಸಂಚರಿಸುತ್ತಾಳೆ,  ಹಾದಿಯಲ್ಲಿ  ಅವರಿಗೆ  ಪ್ರಸನ್ನಳಾಗಿ  ಕಾಣಿಸಿಕೊಳ್ಳುತ್ತಾಳೆ,  ಅವರ  ಪ್ರತಿಯೊಂದು  ಆಲೋಚನೆಯಲ್ಲೂ  ಅವರೊಂದಿಗಿರುತ್ತಾಳೆ.

ಕೀರ್ತನೆ:                        63:1-7

ಶ್ಲೋಕ:  ದೇವಾ, ನೀ ಎನ್ನ ದೇವಾ ನಿನಗಾಗಿ ನಾ ಕಾದಿರುವೆ |

1.  ದೇವಾ,  ನೀಯೆನ್ನ  ದೇವಾ,  ನಿನಗಾಗಿ  ನಾ  ಕಾದಿರುವೆ|

ನಿರ್ಜಲ  ಮರುಭೂಮಿಯಲಿ  ನೀರಿಗಾಗಿ  ಹಾತೊರೆವಂತೆ|

ನಿನಗೋಸ್ಕರ  ಎನ್ನ  ತನು  ಸೊರಗಿದೆ,   ಮನ   ಬಾಯಾರಿದೆ||

 

2.  ನಿನ್ನ  ಮಂದಿರದಲಿ  ನನಗಾದ  ದರ್ಶನದಲಿ|

ನಿನ್ನ  ಶಕ್ತಿ  ಪ್ರತಿಭೆಯನು  ಕಂಡಿರುವೆನಲ್ಲಿ||

ಪ್ರಾಣಕ್ಕಿಂತ  ಮಿಗಿಲಾದುದು  ನಿನ್ನಚಲ  ಪ್ರೀತಿ|

ಎಡೆಬಡದೆ  ಮಾಳ್ಪುದು  ನನ್ನೀ  ತುಟಿ  ನಿನ್ನ  ಸ್ತುತಿ||

 

3.  ನಿನ್ನ  ಸ್ತುತಿಸುವೆ  ಜೀವಮಾನ  ಪರಿಯಂತ|

ಕೈ  ಮುಗಿವೆ  ನಿನ್ನ  ನಾಮದ  ಸ್ಮರಣಾರ್ಥ||

ಮೃಷ್ಟಾನ್ನ  ತಿಂದಂತೆ  ಎನ್ನ  ಮನ  ಸಂತೃಪ್ತ| 

ಸಂಭ್ರಮದಿಂದ  ನಿನ್ನ  ಹೊಗಳುವುದು  ಬಾಯ್ತುಂಬ||

ಎರಡನೆಯ  ವಾಚನ : ಪೌಲನು  ಥೆಸಲೋನಿಯರಿಗೆ  ಬರೆದ  ಮೊದಲನೆಯ  ಪತ್ರ  :4:13-18

Uploading: 318570 of 318570 bytes uploaded.

ಸಹೋದರರೇ,  ಮೃತರ  ಮುಂದಿನ  ಸ್ಥಿತಿಗತಿಯ  ವಿಷಯವಾಗಿ  ನೀವು  ತಿಳಿದಿರಬೇಕು  ಎಂಬುದೇ  ನಮ್ಮ  ಬಯಕೆ.  ಏಕೆಂದರೆ,  ನಂಬಿಕೆ  ನಿರೀಕ್ಷೆಯಿಲ್ಲದ  ಇತರರಂತೆ  ಮೃತರಿಗಾಗಿ  ನೀವು  ದುಃಖಿಸಬಾರದು.  ಯೇಸು  ಸತ್ತು  ಪುನರುತ್ಥಾನ  ಹೊಂದಿದರೆಂದು  ನಾವು  ವಿಶ್ವಾಸಿಸುತ್ತೇವೆ  ಅಲ್ಲವೇ?  ಹಾಗೆಯೇ,  ಕ್ರಿಸ್ತ  ಯೇಸುವಿನಲ್ಲಿ  ವಿಶ್ವಾಸವಿಟ್ಟು  ಮರಣಹೊಂದಿದವರನ್ನು  ದೇವರು  ಯೇಸುಕ್ರಿಸ್ತರೊಡನೆ  ಮರಳಿ  ಕರೆದುಕೊಳ್ಳುತ್ತಾರೆ.  ಪ್ರಭುವಿನ  ವಾಕ್ಯದ  ಆಧಾರದ  ಮೇಲೆ  ನಾವು  ನಿಮಗೆ  ಹೇಳುತ್ತೇವೆ:   ಪ್ರಭು  ಪುನರಾಗಮಿಸುವಾಗ,  ಇನ್ನೂ  ಬದುಕಿರುವ  ನಾವು  ಮೃತರಾಗಿರುವ  ಇತರರಿಗಿಂತಲೂ  ಮುಂದಿನವರಾಗುವುದಿಲ್ಲ.  ಆಜ್ಞಾಘೋಷವಾದಾಗ,  ಪ್ರಧಾನ  ದೂತನ  ಧ್ವನಿಯು  ಕೇಳಿಬಂದಾಗ,  ದೇವರ  ತುತೂರಿ  ನಾದಗೈದಾಗ,  ಪ್ರಭುವೇ  ಸ್ವರ್ಗದಿಂದ  ಇಳಿದು  ಬರುತ್ತಾರೆ.  ಆಗ,  ಕ್ರಿಸ್ಥಸ್ತರಾಗಿ  ಮೃದರಾದವರು  ಮೊದಲು  ಎದ್ದು  ಬರುತ್ತಾರೆ.  ಆಮೇಲೆ,  ಇನ್ನೂ  ಬದುಕಿರುವ  ನಾವು  ಎದ್ದುಬಂದವರೊಡನೆ  ಆಕಾಶಮಂಡಲದಲ್ಲಿ  ಪ್ರಭುವನ್ನು  ಎದುರುಗೊಳ್ಳಲು  ಮೇಘಾರೂಢರಾಗಿ  ಮೇಲಕ್ಕೆ  ಒಯ್ಯಲ್ಪಡುತ್ತೇವೆ.   ಹೀಗೆ  ಸರ್ವದಾ  ನಾವು  ಪ್ರಭುವಿನೊಂದಿಗೆ  ಇರುತ್ತೇವೆ.  ಆದ್ದರಿಂದ,  ಈ  ಮಾತುಗಳಿಂದ  ಒಬ್ಬರನ್ನೊಬ್ಬರು  ಸಂತೈಸಿಕೊಳ್ಳಿ.

ಘೋಷಣೆ

ಅಲ್ಲೆಲೂಯ, ಅಲ್ಲೆಲೂಯ!

ನೀವು  ಸಹ  ಸಿದ್ದರಾಗಿರಿ;  ಏಕೆಂದರೆ  ನರಪುತ್ರನು  ನೀವು  ನಿರೀಕ್ಷಿಸದ  ಗಳಿಗೆಯಲ್ಲಿ  ಬರುವನು, ಅಲ್ಲೆಲೂಯ!

ಶುಭಸಂದೇಶ : ಮತ್ತಾಯ 25:1-13


ಆ  ಕಾಲದಲ್ಲಿ  ಯೇಸು,  ತಮ್ಮ  ಶಿಷ್ಯರಿಗೆ  ಹೀಗೆಂದರು:  "ಆ  ದಿನಗಳಲ್ಲಿ  ಸ್ವರ್ಗಸಾಮ್ರಾಜ್ಯ  ಹೇಗಿರುವುದು  ಎನ್ನುವುದಕ್ಕೆ  ಈ  ಸಾಮತಿಯನ್ನು  ಕೊಡಬಹುದು:   ಹತ್ತು  ಮಂದಿ  ಕನ್ಯೆಯರು  ದೀಪಾರತಿ  ಹಿಡಿದು  ಮದುವಣಿಗನನ್ನು  ಎದುರುಗೊಳ್ಳಲು  ಹೋದರು.  ಅವರಲ್ಲಿ  ಐವರು  ವಿವೇಕಿಗಳು,  ಐವರು  ಅವಿವೇಕಿಗಳು.  ಅವಿವೇಕಿಗಳು  ದೀಪಗಳನ್ನು  ತೆಗೆದುಕೊಂಡರೇ  ಹೊರತು  ಜೊತೆಗೆ  ಎಣ್ಣೆಯನ್ನು  ತೆಗೆದುಕೊಳ್ಳಲಿಲ್ಲ.  ವಿವೇಕಿಗಳಾದರೋ  ದೀಪಗಳ  ಜೊತೆಗೆ  ಬುಡ್ಡಿಗಳಲ್ಲಿ  ಎಣ್ಣೆಯನ್ನೂ   ತೆಗೆದುಕೊಂಡರು.  ಮದುವಣಿಗ  ಬರುವುದು  ತಡವಾಯಿತು.  ಅವರೆಲ್ಲರೂ  ತೂಕಡಿಸುತ್ತಾ  ಹಾಗೇ  ನಿದ್ರೆಹೋದರು.  ನಡುರಾತ್ರಿಯ  ವೇಳೆ.  "ಇಗೋ,  ಮದುವಣಿಗ   ಬರುತ್ತಿದ್ದಾನೆ ; ಬನ್ನಿ,  ಆತನನ್ನು  ಎದುರುಗೊಳ್ಳಿ, 'ಎಂಬ  ಕೂಗು  ಕೇಳಿಸಿತು.  ಕನ್ಯೆಯರೆಲ್ಲರೂ  ಎದ್ದರು.  ತಮ್ಮತಮ್ಮ  ದೀಪದ  ಬತ್ತಿಯನ್ನು  ಸರಿಮಾಡಿದರು.  ಅವಿವೇಕಿಗಳು,  'ನಮ್ಮ  ದೀಪಗಳು ಆರಿಹೋಗುತ್ತಾ   ಇವೆ;  ನಿಮ್ಮ  ಎಣ್ಣೆಯಲ್ಲಿ  ನಮಗೂ  ಕೊಂಚ  ಕೊಡಿ, 'ಎಂದು  ವಿವೇಕಿಗಳನ್ನು  ಕೇಳಿಕೊಂಡರು.  ಅದಕ್ಕೆ  ಅವರು,  'ನಿಮಗೆ  ಕೊಟ್ಟರೆ  ನಮಗೂ  ನಿಮಗೂ  ಸಾಲದೆ  ಹೋದೀತು.  ನೀವು  ಅಂಗಡಿಗೆ  ಹೋಗಿ  ಕೊಂಡುಕೊಂಡರೆ  ಒಳ್ಳೆಯದು, ' ಎಂದರು.  ಅಂತೆಯೇ  ಅವರು  ಎಣ್ಣೆಯನ್ನು  ಕೊಂಡುಕೊಳ್ಳಲು  ಹೋದಾಗ  ಮದುವಣಿಗನು  ಬಂದೇಬಿಟ್ಟನು.  ಸಿದ್ದರಾಗಿದ್ದವರು  ಅವರ  ಸಂಗಡ  ವಿವಾಹ  ಮಹೋತ್ಸವಕ್ಕೆ  ಹೋದರು.  ಕಲ್ಯಾಣಮಂಟಪದ  ಬಾಗಿಲುಗಳನ್ನು  ಮುಚ್ಚಲಾಯಿತು.  ಉಳಿದ  ಕನ್ಯೆಯರು  ಅನಂತರ  ಬಂದರು.  'ಸ್ವಾಮೀ,  ಸ್ವಾಮೀ,  ನಮಗೆ  ಬಾಗಿಲು  ತೆರೆಯಿರಿ, 'ಎಂದು  ಕೂಗಿಕೊಂಡರು.  ಅದಕ್ಕೆ  ಉತ್ತರವಾಗಿ  ಆ  ಮದುವಣಿಗ,  'ಅದಾಗದು,  ನೀವು  ಯಾರೋ  ನನಗೆ  ಗೊತ್ತಿಲ್ಲ,  'ಎಂದುಬಿಟ್ಟ.  ಆದ್ದರಿಂದ  ಜಾಗೃತರಾಗಿರಿ !  ಏಕೆಂದರೆ  ಆ  ದಿನವಾಗಲಿ,  ಆ  ಗಳಿಗೆಯಾಗಲಿ  ಯಾವಾಗ  ಬರುತ್ತದೆಂದು  ನಿಮಗೆ  ತಿಳಿಯದು."

Friday, November 6, 2026

07.11.2026 - ಸಣ್ಣ ವಿಷಯಗಳಲ್ಲಿ ಪ್ರಾಮಾಣಿಕನಾಗಿ ನಡೆದುಕೊಳ್ಳುವವನು ದೊಡ್ಡ ವಿಷಯಗಳಲ್ಲೂ ಪ್ರಾಮಾಣಿಕನಾಗಿ ನಡೆದುಕೊಳ್ಳುತ್ತಾನೆ.

 ಮೊದಲನೇ ವಾಚನ: ಫಿಲಿಪ್ಪಿಯರಿಗೆ 4:10-19


ಸಹೋದರರೇ, ನನ್ನ ಬಗ್ಗೆ ನಿಮಗಿರುವ ಮಮತೆಯು ಇಷ್ಟು ದಿನಗಳಾದ ಮೇಲೆ ಪುನಃ ಅರಳಿದ್ದಕ್ಕೆ ಪ್ರಭುವಿನಲ್ಲಿ ನಾನು ಬಹಳ ಸಂತೋಷಪಡುತ್ತೇನೆ. ಇಂಥ ಮಮತೆ ನಿಮಗೆ ಮೊದಲಿನಿಂದ ಇತ್ತಾದರೂ ಅದನ್ನು ವ್ಯಕ್ತಪಡಿಲು ನಿಮಗೆ ಸೂಕ್ತ ಸಂದರ್ಭ ಒದಗಿರಲಿಲ್ಲ. ನಾನು ಯಾವುದೋ ಕೊರತೆಯಲ್ಲಿರುವೆನೆಂದು ಸೂಚಿಸಲು ಇದನ್ನು ಹೇಳುತ್ತಿಲ್ಲ. ನಾನು ಯಾವ ಸ್ಥಿತಿಯಲ್ಲಿದ್ದರೂ ತೃಪ್ತಿಯಿಂದಿರಲು ಕಲಿತುಕೊಂಡಿದ್ದೇನೆ. ಬಡತನ ಇರಲಿ, ಸಿರಿತನವಿರಲಿ, ಕೊರತೆಯಿರಲಿ, ಸಮೃದ್ಧಿ ಇರಲಿ, ಹಸಿದಿರಲಿ, ಹೊಟ್ಟೆ ತುಂಬಿರಲಿ - ಯಾವ ಸ್ಥಿತಿಯಲ್ಲಿದ್ದರೂ, ಎಲ್ಲಾ ವೇಳೆಯಲ್ಲಿಯೂ ತೃಪ್ತನಾಗಿರುವ ರಹಸ್ಯವನ್ನು ತಿಳಿದಿದ್ದೇನೆ. ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ. ಆದರೂ ನನ್ನ ಸಂಕಷ್ಟಗಳಲ್ಲಿ ಸಹಾಯ ಮಾಡಿದುದು ನಿಮ್ಮ ಸೌಜನ್ಯವೇ ಸರಿ. ಫಿಲಿಪ್ಪಿಯ ಸಹೋದರರೇ, ನಾನು ಶುಭಸಂದೇಶವನ್ನು ಸಾರಲು ಹೊರಟ ಪ್ರಾರಂಭದ ದಿನಗಳಲ್ಲಿ ಮಕೆದೋನಿಯವನ್ನು ಬಿಟ್ಟುಹೋದಾಗ ನೀವಲ್ಲದೆ ಬೇರೆ ಯಾವ ಸಭೆಯೂ ನನ್ನ ಆಯ-ವ್ಯಯಗಳಲ್ಲಿ ನೆರವಾಗಿರಲಿಲ್ಲ. ಇದು ನಿಮಗೆ ತಿಳಿದ ವಿಷಯ. ನಾನು ಥೆಸಲೋನಿಕದಲ್ಲಿದ್ದಾಗಲೂ ನನ್ನ ಕೊರತೆಯನ್ನು ನೀಗಿಸಲು ಒಂದೆರಡು ಬಾರಿ ಧನಸಹಾಯವನ್ನು ಕಳುಹಿಸಿದಿರಿ. ನಿಮ್ಮಿಂದ ಸಹಾಯ ಪಡೆಯಬೇಕೆಂಬುದು ನನ್ನ ಉದ್ದೇಶವಲ್ಲ. ಆದರೆ ಈ ಸಹಾಯದಿಂದ ನಿಮಗೆ ಮುಂದೆ ದೊರಕುವ ಪ್ರತಿಫಲವು ಸಮೃದ್ಧಿಯಾಗಲೆಂದೇ ನನ್ನ ಇಚ್ಛೆ. ನೀವು ಕಳುಹಿಸಿಕೊಟ್ಟಿದ್ದೆಲ್ಲವೂ ನನಗೆ ಸಂದಾಯವಾಗಿದೆ. ಈಗ ಅಗತ್ಯಕ್ಕಿಂತಲೂ ಅಧಿಕವಾಗಿದೆ, ಯಥೇಚ್ಛವಾಗಿದೆ. ಎಪಫ್ರೋದಿತನ ಮೂಲಕ ನೀವು ಕಳುಹಿಸಿದ್ದೆಲ್ಲವೂ ನನಗೆ ತಲುಪಿದೆ. ನಿಮ್ಮ ಕೊಡುಗೆ ಸುಗಂಧ ಕಾಣಿಕೆಯಾಗಿದೆ, ದೇವರಿಗೆ ಮೆಚ್ಚಿಗೆಯಾದ ಇಷ್ಟಾರ್ಥ ಬಲಿಯಾಗಿದೆ. ನನ್ನ ದೇವರು ತಮ್ಮ ಮಹದೈಶ್ವರ್ಯದಿಂದ ನಿಮ್ಮ ಅಗತ್ಯಗಳನ್ನೆಲ್ಲಾ ಕ್ರಿಸ್ತಯೇಸುವಿನ ಮುಖಾಂತರ ಪೂರೈಸುವರು. ನಮ್ಮ ತಂದೆಯಾದ ದೇವರಿಗೆ ನಿರಂತವೂ ಮಹಿಮೆ ಸಲ್ಲಲಿ!

ಕೀರ್ತನೆ: 112:1-2, 5-6, 8, 9

ಶ್ಲೋಕ: ಪ್ರಭುವಿನಲಿ ಭಯಭಕ್ತಿಯುಳ್ಳವನು ಧನ್ಯನು 

1.  ಪ್ರಭುವಿನಲಿ ಭಯಭಕ್ತಿಯುಳ್ಳವನು ಧನ್ಯನು|
ಆತನಾಜ್ಞೆಗಳಲಿ ಹಿಗ್ಗುವವನು ಭಾಗ್ಯನು||
ಬಲಿಷ್ಠವಾಗುವುದು ಜಗದೊಳು ಅವನ ಸಂತಾನ|
ಸಜ್ಜನರ ಸಂತತಿ ಪಡೆವುದು ಆಶೀರ್ವಚನ||
ಶ್ಲೋಕ

2.  ದಯೆತೋರಿ ಧನಸಹಾಯ ಮಾಡುವವನು ಭಾಗ್ಯವಂತ|
ನ್ಯಾಯದಿಂದ ವ್ಯವರಿಸುವಂಥಾ ಮನುಜನು ಭಾಗ್ಯವಂತ||
ಅಚಲನಾಗಿರುವನು ನೀತಿವಂತನು|
ಮರೆಯಲಾರರು ಎಂದಿಗೂ ಆತನನು||
ಶ್ಲೋಕ

3.  ದೃಢವಿದೆ ಅವನ ಮನ,  ಎದೆಗುಂದನವನು|
ಉದಾರತೆಯಿಂದ ಕೊಡುವನು ಬಡವರಿಗೆ||
ಫಲಿಸುವುದು ಅವನಾ ನೀತಿ ಸದಾಕಾಲಕೆ|
ಮಹಿಮೆ ತರುವ ಕೋಡು ಮೂಡುವುದು ಅವನಿಗೆ||
ಶ್ಲೋಕ

ಘೋಷಣೆ
(ಯಕೋಬ 1: 18)

ಅಲ್ಲೆಲೂಯ, ಅಲ್ಲೆಲೂಯ.
ಸೃಷ್ಟಿಗಳಲೆಲ್ಲ ನಾವು ಪ್ರಥಮ ಫಲವಾಗುವಂತೆ | ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯ ವಾಕ್ಯದ ಮೂಲಕ ನಮಗೆ ಜೀವವಿತ್ತರು ||
ಅಲ್ಲೆಲೂಯ.



ಶುಭಸಂದೇಶ: ಲೂಕ 16:9-15



ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ನಾನು ಹೇಳುವುದನ್ನು ಗಮನಿಸಿರಿ; ಲೌಕಿಕ ಆಸ್ತಿಪಾಸ್ತಿಯಿಂದ ಗೆಳೆಯರನ್ನು ಗಳಿಸಿಕೊಳ್ಳಿರಿ. ಅದು ವ್ಯಯವಾಗಿ ಹೋದಾಗ ನಿಮ್ಮನ್ನು ಅಮರ ನಿವಾಸಕ್ಕೆ ಸ್ವಾಗತಿಸಲಾಗುವುದು. ಸಣ್ಣ ವಿಷಯಗಳಲ್ಲಿ ಪ್ರಾಮಾಣಿಕನಾಗಿ ನಡೆದುಕೊಳ್ಳುವವನು ದೊಡ್ಡ ವಿಷಯಗಳಲ್ಲೂ ಪ್ರಾಮಾಣಿಕನಾಗಿ ನಡೆದುಕೊಳ್ಳುತ್ತಾನೆ. ಸಣ್ಣ ವಿಷಯಗಳಲ್ಲಿ ದ್ರೋಹ ಮಾಡುವವನು ದೊಡ್ಡ ವಿಷಯಗಳಲ್ಲೂ ದ್ರೋಹಮಾಡುತ್ತಾನೆ. ಲೌಕಿಕ ಆಸ್ತಿಪಾಸ್ತಿಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆ ಹೋದರೆ, ನಿಮ್ಮನ್ನು ನಂಬಿ ನೈಜ ಸಂಪತ್ತನ್ನು ನಿಮ್ಮ ವಶಕ್ಕೆ ಕೊಡುವವರಾರು? ಇನ್ನೊಬ್ಬರಿಗೆ ಸೇರಿದ ವಸ್ತುಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆ ಹೋದರೆ, ನಿಮ್ಮ ಸ್ವಂತಕ್ಕೆ ಏನನ್ನಾದರೂ ಕೊಡುವವರಾರು? “ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾಗದು; ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು,” ಎಂದರು. ಹಣದಾಶೆಯಿಂದ ಕೂಡಿದ್ದ ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ, ಯೇಸುವನ್ನು ಪರಿಹಾಸ್ಯಮಾಡಿದರು. ಅದಕ್ಕೆ ಯೇಸು, “ನೀವು ಮಾನವರ ಮುಂದೆ ಸತ್ಪುರುಷರೆಂದು ತೋರಿಸಿಕೊಳ್ಳುತ್ತೀರಿ; ದೇವರಾದರೋ ನಿಮ್ಮ ಅಂತರಂಗವನ್ನು ಅರಿತಿದ್ದಾರೆ. ಮಾನವರಿಗೆ ಅಮೂಲ್ಯವಾದುದು ದೇವರಿಗೆ ಅಸಹ್ಯವಾದುದು,” ಎಂದರು.

Thursday, November 5, 2026

06.11.2026 - ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು

 ಮೊದಲನೆಯ ವಾಚನ: ಪೌಲನು ಫಿಲಿಪ್ಪಿಯರಿಗೆ ಬರೆದ ಪತ್ರದಿಂದ ವಾಚನ 3:17--4:1


ಸಹೋದರರೇ, ನೀವು ನನ್ನನ್ನು ಅನುಸರಿಸಿರಿ. ನಮ್ಮಂತೆ ಆದರ್ಶಜೀವನ ನಡೆಸುವವರನ್ನು ಅನುಸರಿಸಿ ಬಾಳಿರಿ. ಕ್ರಿಸ್ತ ಯೇಸುವಿನ ಶಿಲುಬೆಗೆ ವಿರೋಧವಾಗಿ ನಡೆಯುವವರು ಆನೇಕರಿದ್ದಾರೆ. ಇದನ್ಯು ನಾನು ಹಲವಾರು ಸಾರಿ ತಿಳಿಸಿರುವಂತೆ ಈಗಲೂ ಅತೀವ ದುಃಖದಿಂದ ಹೇಳುತ್ತಿದ್ದೇನೆ. ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ. ನಾವಾದರೋ ಸ್ವರ್ಗಸಾಮ್ರಾಜ್ಯದ ಪ್ರಜೆಗಳು. ಉದ್ಧಾರಕರಾದ ಪ್ರಭು ಯೇಸುಕ್ರಿಸ್ತರು ಪುನರಾಗಮಿಸುವುದು ಅಲ್ಲಿಂದಲೇ ಎಂದು ಎದುರುನೋಡುತ್ತಿದ್ದೇವೆ. ಅವರು ಸಮಸ್ತವನ್ನು ಸ್ವಾಧೀನಪಡಿಸಿಕೊಳ್ಳುವರು; ನಶ್ವರವಾದ ನಮ್ಮ ದೀನ ದೇಹಗಳನ್ನು ತಮ್ಮ ಶಕ್ತಿಯಿಂದ ರೂಪಾಂತರಗೊಳಿಸಿ ತಮ್ಮ ತೇಜೋಮಯ ಶರೀರದಂತೆ ಮಾಡುವರು. ಹೀಗಿರಲಾಗಿ ಒಲವಿನ ಸಹೋದರರೇ, ನನ್ನ ಅತಿ ಪ್ರಿಯರೇ, ಆಪ್ತರೇ, ನನ್ನ ಮುದುವೂ ಮುಕುಟವೂ ಆದವರೇ, ಪ್ರಭುವಿನಲ್ಲಿ ದೃಢ ವಿಶ್ವಾಸಿಗಳಾಗಿ ಬಾಳಿರಿ.

ಕೀರ್ತನೆ 122:1-5

ಶ್ಲೋಕ: ಪ್ರಭುವಿನಾಲಯಕೆ ಹೋಗೋಣ ಬಾ ಎಂದು ಜನರೆನ್ನ ಕರೆದಾಗ ಆಯಿತೆನಗೆ ಆನಂದ|

ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ|
ಆಯಿತೆನಗೆ ಆನಂದ ಜನರೆನ್ನ ಕರೆದಾಗ||
ನಮ್ಮ ಕಾಲುಗಳು ಓ ಜೆರುಸಲೇಮೇ|
ತಲುಪಿವೆ ನಿನ್ನ ಪುರದ್ವಾರಗಳನೇ||

ನೋಡು ಜೆರುಸಲೇಮ್ ಪಟ್ಟಣವಿದು|
ಗಟ್ಟಿಯಾಗಿಯೇ ಕಟ್ಟಲ್ಪಟ್ಟಿಹುದು|
ಕುಲಗಳು ಯಾತ್ರೆಯಾಗಿ ಬರುವುವು ಇಲ್ಲಿಗೆ||

ಮಾಡುವರಿಲ್ಲಿಯೇ ಪ್ರಭುವಿನ ನಾಮ ಕೀರ್ತನೆ|
ಪಾಲಿಪರಿಂತು ಇಸ್ರಯೇಲರಿಗೆ ವಿಧಿಸಿದಾಜ್ಞೆ||
ಸ್ಥಾಪಿತವಾಗಿವೆಯಿಲ್ಲಿ ನ್ಯಾಯಪೀಠಗಳು|
ದಾವೀದನ ಮನೆತನದವರ ಸಿಂಹಾಸನಗಳು||

ಶುಭಸಂದೇಶ ವಾಚನ: ಲೂಕ 16:1-8


ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರನ್ನು ಉದ್ದೇಶಿಸಿ ಇಂತೆಂದರು: " ಒಬ್ಬ ಧನಿಕನಿದ್ದ, ಅವನ ವ್ಯವಹಾರಗಳನ್ನು ನೋಡಿಕೊಳ್ಳಲು ಒಬ್ಬ ಮೇಸ್ತ್ರಿಯಿದ್ದ. ಇವನು ಧನಿಕನ ಆಸ್ತಿಯನ್ನು ಹಾಳುಮಾಡುತ್ತಿದ್ದಾನೆಂದು ದೂರು ಬಂದಿತು. ಧನಿಕನು ಅವನನ್ನು ಕರೆದು, ' ಏನಿದು, ನಿನ್ನ ವಿಷಯವಾಗಿ ನಾನು ಹೀಗೆಲ್ಲ ಕೇಳುತ್ತಾ ಇದ್ದೇನೆ? ನಿನ್ನ ಕೆಲಸದ ಲೆಕ್ಕಾಚಾರವನ್ನು ಒಪ್ಪಿಸಿಬಿಡು. ಇನ್ನು ನೀನು ಮೇಸ್ತ್ರಿ ಆಗಿರಲು ಆಗದು, ' ಎಂದ. ಆಗ ಆ ಮೇಸ್ತ್ರಿ, 'ಈಗ ಏನು ಮಾಡಲಿ? ಯಜಮಾನನು ನನ್ನನ್ನು ಕೆಲಸದಿಂದ ತೆಗೆದು ಬಿಡುತ್ತಾನಲ್ಲಾ ; ಅಗೆಯಲು ಶಕ್ತಿ ಸಾಲದು; ಭಿಕ್ಷೆ ಬೇಡಲು ನನಗೆ ನಾಚಿಕೆ, 'ಎಂದು ಚಿಂತಾಕ್ರಾಂತನಾದ. ಮರುಕ್ಷಣ, 'ಸರಿ, ಕೆಲಸದಿಂದ ನನ್ನನ್ನು ತೆಗೆದುಹಾಕಿದ ಮೇಲೆ, ಜನರು ನನ್ನನ್ನು ತಮ್ಮ ಮನೆಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ಈಗ ಗೊತ್ತಾಯಿತು, ' ಎಂದುಕೊಂಡ. ಯಜಮಾನನ ಸಾಲಗಾರರನ್ನು ಒಬ್ಬೊಬ್ಬರನ್ನಾಗಿ ಬರಮಾಡಿಕೊಂಡು, 'ನೀನು ನನ್ನ ಯಜಮಾನನಿಗೆ ತೀರಿಸಬೇಕಾದ ಸಾಲ ಎಷ್ಟು? 'ಎಂದು ಮೊದಲನೆಯವನನ್ನು ಕೇಳಿದ. ಅವನು, 'ನೂರು ಬುದ್ದಲಿ ಎಣ್ಣೆ, 'ಎಂದ. ಅದಕ್ಕೆ ಮೇಸ್ತ್ರಿ, 'ಇಗೋ, ನಿನ್ನ ಪತ್ರ, ಕುಳಿತುಕೊಂಡು " ಐವತ್ತು " ಎಂದು ಬೇಗನೆ ಬರೆ, 'ಎಂದ. ಬಳಿಕ ಇನ್ನೊಬ್ಬನನ್ನು ಕರೆದು, 'ನೀನೆಷ್ಟು ಸಾಲ ತೀರಿಸಬೇಕು? ' ಎಂದು ಕೇಳಿದ. ಅವನು ' ನೂರು ಖಂಡುಗ ಗೋದಿ ' ಎಂದಾಗ, 'ಇಗೋ, ನಿನ್ನ ಪತ್ರ, " ಎಂಭತ್ತು, " ಎಂದು ಬರೆ ' 'ಎಂದ. ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು."

Wednesday, November 4, 2026

05.11.2026 - ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,

 ಮೊದಲನೇ ವಾಚನ: ಫಿಲಿಪ್ಪಿಯರಿಗೆ 3:3-8


ಸಹೋದರರೇ, ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ. ಇಂಥ ಬಾಹ್ಯಾಚರಣೆಯಲ್ಲಿ ನಂಬಿಕೆ ಇಡಲು ತಮಗೆ ಹಕ್ಕು ಇದೆಯೆಂದು ಯಾರಾದರೂ ಭಾವಿಸಿದರೆ, ನನ್ನ ಹಕ್ಕು ಅದಕ್ಕೂ ಮಿಗಿಲಾದುದು ಎಂದೇ ಹೇಳುತ್ತೇನೆ. ಹುಟ್ಟಿದ ಎಂಟನೆಯ ದಿನ ನನಗೆ ಸುನ್ನತಿಯಾಯಿತು; ಹುಟ್ಟಿನಿಂದ ನಾನು ಇಸ್ರಯೇಲನು, ಬೆನ್ಯಮೀನ ಕುಲದವನು; ಅಪ್ಪಟ ಹಿಬ್ರಿಯನು, ಧರ್ಮಶಾಸ್ತ್ರದ ದೃಷ್ಟಿಯಲ್ಲಿ ನಿಷ್ಠಾವಂತ ಫರಿಸಾಯನು; ಮತಾಶಕ್ತಿಯ ಹಿತದೃಷ್ಟಿಯಿಂದ ಧರ್ಮಸಭೆಯ ಹಿಂಸಕನು; ಧರ್ಮಶಾಸ್ತ್ರ ವಿಧಿನಿಯಮಗಳ ಪಾಲನೆಯಲ್ಲಿ ನಿಂದಾರಹಿತನು. ಇವನ್ನೆಲ್ಲಾ ಲಾಭವೆಂದು ಪರಿಗಣಿಸಿದ್ದ ನಾನು ಈಗ ಕ್ರಿಸ್ತಯೇಸುವಿನ ಸಲುವಾಗಿ ನಷ್ಟವೆಂದೇ ಎಣಿಸುತ್ತೇನೆ. ನಿಶ್ಚಯವಾಗಿಯೂ ನನ್ನ ಪ್ರಭು ಯೇಸುಕ್ರಿಸ್ತರನ್ನು ಅರಿತುಕೊಳ್ಳುವುದೇ ಉತ್ಕೃಷ್ಟವಾದುದೆಂದು ಮನದಟ್ಟಾಗಿರುವುದರಿಂದ ಸಮಸ್ತವನ್ನೂ ವ್ಯರ್ಥವೆಂದೇ ಎಣಿಸುತ್ತೇನೆ. ಅವರನ್ನು ಲಭ್ಯವಾಗಿಸಿಕೊಳ್ಳುವ ಸಲುವಾಗಿ ಎಲ್ಲವನ್ನೂ ತೊರೆದುಬಿಟ್ಟಿದ್ದೇನೆ, ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ. 


ಕೀರ್ತನೆ: 105:2-3, 4-5, 6-7

ಶ್ಲೋಕ: ಹಿಗ್ಗಲಿ ಹೃದಯ, ಕೋರಿ ಪ್ರಭುವಿನ ದರ್ಶನ 

1.  ಹಾಡಿಪಾಡಿ ಹೊಗಳಿರಿ ಪ್ರಭುವನು|
ಧ್ಯಾನಿಸಿ ನೀವು ಆತನ ಪವಾಡಗಳನು||
ಹೆಮ್ಮೆಪಡಿ ನೆನೆದಾತನ ಶ್ರೀ ನಾಮ|
ಹಿಗ್ಗಲಿ ಹೃದಯ ಕೋರಿ ಆತನ ದರ್ಶನ||
ಶ್ಲೋಕ

2.  ಅರಸಿರಿ ಪ್ರಭುವನು ಆತನ ಶಕ್ತಿಯನೂ|
ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು||
ಆತನ ದಾಸ ಅಬ್ರಹಾಮನ ಸಂತತಿಯವರೇ|
ಆತನಾರಿಸಿಕೊಂಡ ಯಕೋಬನ ವಂಶದವರೇ||
ಶ್ಲೋಕ

3.  ನೆನೆಯಿರಿ ಆತನದ್ಬುತಗಳನು,
ಮಹತ್ಕಾರ್ಯಗಳನು|
ಆತನ ವದನ ವಿಧಿಸಿದ ಆ ನ್ಯಾಯ ನಿರ್ಣಯಗಳನು||
ಪ್ರಭು ನಮ್ಮ ದೇವನೆಂಬುದು ಶ್ರುತ|
ಆತನಿತ್ತ ತೀರ್ಪು ಇದೋ ವಿಶ್ವವ್ಯಾಪ್ತ||
ಶ್ಲೋಕ

ಘೋಷಣೆ (2,ತಿಮೊಥಿ 1: 10)

ಅಲ್ಲೆಲೂಯ, ಅಲ್ಲೆಲೂಯ.
ಕ್ರಿಸ್ತ  ಯೇಸು  ಮೃತ್ಯು  ಶಕ್ತಿಯನ್ನು  ವಿನಾಶಗೊಳಿಸಿ | ಅಮರ  ಜೀವವನ್ನು  ಶುಭಸಂದೇಶದ  ಮೂಲಕ  ಬೆಳಕಿಗೆ  ತಂದರು.
ಅಲ್ಲೆಲೂಯ.

ಶುಭಸಂದೇಶ: ಲೂಕ 15:1-10



ಯೇಸುಸ್ವಾಮಿಯ ಉಪದೇಶವನ್ನು ಕೇಳಲು ಎಲ್ಲಾ ಸುಂಕದವರೂ ಪಾಪಿಗಳೂ ಬರುತ್ತಿದ್ದರು. ಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, “ಈ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರೊಡನೆ ಊಟಮಾಡುತ್ತಾನೆ,” ಎಂದು ಗೊಣಗಿದರು. ಆ ಸಂದರ್ಭದಲ್ಲಿ ಯೇಸು ಈ ಸಾಮತಿಯನ್ನು ಹೇಳಿದರು: “ನಿಮ್ಮಲ್ಲಿ ಯಾರ ಬಳಿಯಾದರೂ ನೂರು ಕುರಿಗಳು ಇವೆ ಎನ್ನೋಣ. ಅವುಗಳಲ್ಲಿ ಒಂದು ಕುರಿ ಕಾಣದೆಹೋದಾಗ ಅವನೇನು ಮಾಡುತ್ತಾನೆ? ಇರುವ ತೊಂಬತ್ತೊಂಬತ್ತು ಕುರಿಗಳನ್ನು ಹುಲ್ಲುಗಾವಲಿನಲ್ಲೇ ಬಿಟ್ಟು ಕಾಣದೆಹೋದ ಆ ಒಂದು ಕುರಿ ಸಿಕ್ಕುವ ತನಕ ಹುಡುಕಿಕೊಂಡು ಹೋಗುತ್ತಾನಲ್ಲವೆ? ಅದು ಸಿಕ್ಕಿದಾಗ ಸಿಕ್ಕಿತೆಂಬ ಸಂತೋಷದಿಂದ ಅದನ್ನು ಹೆಗಲ ಮೇಲೆ ಎತ್ತಿಕೊಂಡು ಮನೆಗೆ ಬರುತ್ತಾನೆ; ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಿಗೆ ಕರೆಯುತ್ತಾನೆ. ‘ಕಳೆದುಹೋಗಿದ್ದ ಕುರಿ ಸಿಕ್ಕಿತು; ನನ್ನೊಡನೆ ಸೇರಿ ಸಂತೋಷಪಡಿ,’ ಎನ್ನುತ್ತಾನೆ, ಅಲ್ಲವೆ? “ಅದೇ ರೀತಿಯಲ್ಲಿ, ಪಶ್ಚಾತ್ತಾಪದ ಅವಶ್ಯಕತೆಯಿಲ್ಲದ ತೊಂಬತ್ತೊಂಬತ್ತು ಸತ್ಪುರುಷರ ವಿಷಯವಾಗಿ ಸ್ವರ್ಗದಲ್ಲಿ ಉಂಟಾಗುವ ಸಂತೋಷಕ್ಕಿಂತ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ. “ಅಂತೆಯೇ, ಮನೆಯಾಕೆಯೊಬ್ಬಳು ತನ್ನ ಬಳಿಯಿದ್ದ ಹತ್ತು ನಾಣ್ಯಗಳಲ್ಲಿ ಒಂದನ್ನು ಕಳೆದುಕೊಂಡಳು ಎನ್ನೋಣ. ಆಗ ಅವಳೇನು ಮಾಡುತ್ತಾಳೆ? ದೀಪ ಹಚ್ಚಿ ಮನೆಯನ್ನು ಗುಡಿಸಿ, ಕಳೆದುಹೋದ ನಾಣ್ಯ ಸಿಕ್ಕುವವರೆಗೂ ಚೆನ್ನಾಗಿ ಹುಡುಕಾಡುತ್ತಾಳೆ, ಅಲ್ಲವೇ? ಅದು ಸಿಕ್ಕಿದಾಗ ತನ್ನ ಗೆಳತಿಯರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು, ‘ಕಳೆದುಹೋದ ನಾಣ್ಯ ಸಿಕ್ಕಿಬಿಟ್ಟಿತು; ನನ್ನೊಡನೆ ಸೇರಿ ಸಂತೋಷಪಡಿ,’ ಎನ್ನುತ್ತಾಳಲ್ಲವೆ? “ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.

Tuesday, November 3, 2026

04.11.2026 - ತನ್ನ ಶಿಲುಬೆಯನ್ನು ಹೊತ್ತು ನನ್ನ ಹಿಂದೆ ಬಾರದವನು ನನ್ನ ಶಿಷ್ಯನಾಗಲಾರನು.

ಮೊದಲನೇ ವಾಚನ: ಫಿಲಿಪ್ಪಿಯರಿಗೆ  2:12-18

ಪ್ರಿಯ ಸಹೋದರರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ, ನಾನು ದೂರವಿರುವಾಗ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿ. ನಿಮ್ಮ ಜೀವೋದ್ಧಾರಕ್ಕಾಗಿ ಭಯಭಕ್ತಿಯಿಂದ ಶ್ರಮಿಸಿರಿ. ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸಫಲವನ್ನೂ ನೀಡುತ್ತಾರೆ. ನೀವು ಮಾಡುವ ಎಲ್ಲಾ ಕಾರ್ಯಗಳನ್ನು ಗೊಣಗುಟ್ಟದೆ, ವಿವಾದವಿಲ್ಲದೆ, ಏಕಮನಸ್ಸಿನಿಂದ ಮಾಡಿ. ನಿರ್ಧೋಷಿಗಳೂ ನಿಷ್ಕಳಂಕರೂ ಆಗಿರಿ. ವಕ್ರಬುದ್ಧಿಯ ದುಷ್ಟಜನರ ನಡುವೆ ದೇವರ ಪರಿಶುದ್ಧ ಮಕ್ಕಳಂತೆ ಬಾಳಿರಿ. ಜೀವದಾಯಕ ಸಂದೇಶವನ್ನು ಎತ್ತಿಹಿಡಿಯಿರಿ; ಆಗ ನಕ್ಷತ್ರಗಳು ಆಕಾಶವನ್ನು ಬೆಳಗಿಸುವಂತೆ ಪ್ರಪಂಚದಲ್ಲಿ ನೀವು ಕಂಗೊಳಿಸುವಿರಿ.ಹೀಗೆ ನೀವು ನಡೆದುಕೊಂಡರೆ  ನನ್ನ ಸೇವೆ ವ್ಯರ್ಥವಾಗದೆ, ಶ್ರಮ ವಿಫಲವಾಗದೆ ಫಲಪ್ರದವಾಯಿತೆಂದು ಕ್ರಿಸ್ತರ ದಿನದಂದು ನಾನು ಹೆಮ್ಮೆ ಪಡಬಹುದು. ನಿಮ್ಮ ವಿಶ್ವಾಸವೆಂಬ ಬಲಿಕಾಣಿಕೆಯ ಮೇಲೆ ನನ್ನ ರಕ್ತವನ್ನು ಧಾರೆಯಾಗಿ ಹರಿಸಬೇಕಾಗಿ ಬಂದರೂ ನನಗೆ ಸಂತೋಷವೇ; ನಿಮ್ಮೆಲ್ಲರೊಡನೆ ಸೇರಿ ಸಂತೋಷಿಸುತ್ತೇನೆ. ಅದೇ ರೀತಿ ನೀವು ಸಹ ನನ್ನೊಡನೆ ಸಂತೊಷದಿಂದ ಸಂಭ್ರಮಿಸುವಿರಿ.

ಕೀರ್ತನೆ: 27:1, 4, 13-14

ಶ್ಲೋಕ: ನನಗೆ ಬೆಳಕು, ನನಗೆ ರಕ್ಷೆ ಪ್ರಭುವೇ.

1.  ನನಗೆ ಬೆಳಕು, ನನಗೆ ರಕ್ಷೆ ಪ್ರಭುವೇ|
ನಾನಾರಿಗೂ ಅಳುಕೆನು||
ನನ್ನ ಬಾಳಿಗಾಧಾರ ಪ್ರಭುವೇ|
ನಾನಾರಿಗೂ. ಅಂಜೆನು||
ಶ್ಲೋಕ

2.  ನಾನೊಂದನು ಕೋರಿದೆ ಪ್ರಭುವಿನಿಂದ|
ನಾನದನ್ನೇ ನಿರೀಕ್ಷಿಸಿದೆ ಆತನಿಂದ||
ವಾಸಿಸಬೇಕು, ನಾನು ಜೀವಮಾನವೆಲ್ಲ ಆತನ ಮಂದಿರದಲ್ಲಿ|
ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ||
ಶ್ಲೋಕ

3.  ಪ್ರಭುವಿನೊಳಿತನು ನಾ ಕಾಣುವೆ ಜೀವಲೋಕದೊಳು|
ನಾನಿಟ್ಟಿರುವೆ ನಂಬಿಕೆ ನೀರಿಕ್ಷೆ ಅದರೊಳು||
ಪ್ರಭುವನು ಎದುರುನೋಡುತ್ತಿರು ಮನವೇ|
ಧ್ಯೆರ್ಯದಿಂದ ನಿರೀಕ್ಷಿಸುತ್ತಿರು ಎದೆಗುಂದದೆ||
ಶ್ಲೋಕ

ಘೋಷಣೆ
(2 ಥೆಸಲೋ. 2: 14)

ಅಲ್ಲೆಲೂಯ, ಅಲ್ಲೆಲೂಯ.
ನಮ್ಮ  ಪ್ರಭು  ಯೇಸು ಕ್ರಿಸ್ತರ  ಮಹಿಮೆಯಲ್ಲಿ  ನೀವು  ಪಾಲುಗೊಳ್ಳುವಂತೆ | ದೇವರು  ಶುಭಸಂದೇಶದ  ಮೂಲಕ  ನಿಮ್ಮನ್ನು  ಕರೆದಿದ್ದಾರೆ ||
ಅಲ್ಲೆಲೂಯ.

ಶುಭಸಂದೇಶ: ಲೂಕ 14: 25-33


ಜನರು ಗುಂಪಾಗಿ ಯೇಸುಸ್ವಾಮಿಯ ಸಂಗಡ ಹೋಗುತ್ತಿದ್ದರು. ಆಗ ಯೇಸು ಅವರ ಕಡೆಗೆ ತಿರುಗಿ ಹೀಗೆಂದರು: "ನನ್ನಲ್ಲಿಗೆ ಬರುವ ಯಾರೊಬ್ಬನೂ ತನ್ನ ತಂದೆ-ತಾಯಿ, ಹೆಂಡತಿ-ಮಕ್ಕಳು, ಸೋದರ-ಸೋದರಿಯರನ್ನು ಮಾತ್ರವಲ್ಲ, ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು. ತನ್ನ ಶಿಲುಬೆಯನ್ನು ಹೊತ್ತು ನನ್ನ ಹಿಂದೆ ಬಾರದವನು ನನ್ನ ಶಿಷ್ಯನಾಗಲಾರನು. ನಿಮ್ಮಲ್ಲಿ ಒಬ್ಬನು ಒಂದು ಗೋಪುರವನ್ನು ಕಟ್ಟಲು ಇಚ್ಚಿಸಿದರೆ, ಕೆಲಸವನ್ನು ಮುಗಿಸಲು ತನ್ನಿಂದ ಸಾಧ್ಯವೇ ಎಂದು ನೋಡಲು, ಮೊದಲು ಕುಳಿತು, ಬೇಕಾಗುವ ಖರ್ಚು ವೆಚ್ಚವನ್ನು ಲೆಕ್ಕ ಹಾಕುವುದಿಲ್ಲವೇ? ಇಲ್ಲದೆ ಹೋದರೆ, ಇವನು ಅಸ್ತಿವಾರ ಹಾಕಿದ ಮೇಲೆ ಕೆಲಸ ಪೂರೈಸದೆ ಇರುವುದನ್ನು ಕಂಡು, "ಕಟ್ಟಲಾರಂಬಿಸಿದ; ಮುಗಿಸಲು ಇವನಿಂದಾಗಲಿಲ್ಲ!" ಎಂದು ನೋಡುವವರೆಲ್ಲರೂ ಅವನನ್ನು ಪರಿಹಾಸ್ಯಮಾಡುವರು.  ಹಾಗೆಯೇ, ಅರಸನೊಬ್ಬನು ಇನ್ನೊಬ್ಬ ಅರಸನ ವಿರುದ್ಧ ಯುದ್ಧಕ್ಕೆ ಹೋಗುವುದಕ್ಕೆ ಮುಂಚೆ ಇಪ್ಪತ್ತು ಸಾವಿರ ಸೈನ್ಯದೊಡನೆ ಬರುವ ಶತ್ರುವನ್ನು ತನ್ನ ಹತ್ತು ಸಾವಿರ ಸೈನ್ಯದಿಂದ ಎದುರಿಸಲು ಸಾಧ್ಯವೇ ಎಂದು ಮೊದಲು ಕುಳಿತು ಆಲೋಚನೆ ಮಾಡುವುದಿಲ್ಲವೇ? ಸಾಧ್ಯವಿಲ್ಲದಿದ್ದರೆ, ಶತ್ರುರಾಜನು ದೂರದಲ್ಲಿರುವಾಗಲೇ ದೂತರನ್ನು ಕಳುಹಿಸಿ, ಸಂಧಾನಕ್ಕೆ ಷರತ್ತುಗಳೇನೆಂದು ವಿಚಾರಿಸುತ್ತಾನೆ. ಅದೇ ಮೇರೆಗೆ, ನಿಮ್ಮಲ್ಲಿ ಯಾವನು ತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ.

Monday, November 2, 2026

03.11.2026 - ದೇವರ ಸಾಮ್ರಾಜ್ಯದ ಔತಣದಲ್ಲಿ ಭಾಗಿಯಾಗುವವನು ಎಷ್ಟೋ ಧನ್ಯನು

ಮೊದಲನೇ ವಾಚನ: ಫಿಲಿಪ್ಪಿಯರಿಗೆ 2:5-11


ಸಹೋದರರೇ, ಕ್ರಿಸ್ತಯೇಸುವಿನಲ್ಲಿರುವ ಮನೋಭಾವ ನಿಮ್ಮಲ್ಲೂ ನೆಲಸಿರಲಿ: ದೇವಸ್ವರೂಪಿ ತಾನಾಗಿದ್ದರೂ ನಿರುತ ದೇವರಿಗೆ ಸಮನಾದ ಆ ಸಿರಿ ಪದವಿಯನಾತ ಹಿಡಿದಿಟ್ಟುಕೊಳ್ಳಲಿಲ್ಲ ಬಿಡಲೊಲ್ಲೆನೆನುತ. ತನ್ನನ್ನೇ ಬರಿದುಮಾಡಿಕೊಂಡು ದಾಸನ ರೂಪವನು ಧರಿಸಿಕೊಂಡು ಮನುಜನಾಕಾರದಲಿ ಕಾಣಿಸಿಕೊಂಡು ನರಮಾನವರಿಗೆ ಸರಿಸಮನಾದ. ತನ್ನನ್ನೇ ಆತ ತಗ್ಗಿಸಿಕೊಂಡು ವಿಧೇಯನಾಗಿ ನಡೆದುಕೊಂಡು ಮರಣಪರಿಯಂತ ಹೌದೌದು, ಶಿಲುಬೆಯ ಮರಣಪರಿಯಂತ ವಿಧೇಯನಾದ. ಎಂತಲೇ ಪರಮೋನ್ನತ ಸ್ಥಾನಕ್ಕೇರಿಸಿದನಾತನನು ಇತ್ತನು ಹೆಸರುಗಳೊಳುತ್ತಮ ಹೆಸರನು ದೇವಪರಮನು. ಯೇಸುವಿನ ಹೆಸರಿಗೆಂದೇ ಮೊಣಕಾಲೂರಿ ಮಣಿವರು ಸ್ವರ್ಗವಾಸಿಗಳು, ಭೂನಿವಾಸಿಗಳು, ಪಾತಾಳ ಜೀವರಾಶಿಗಳು. ‘ಕ್ರಿಸ್ತಯೇಸುವೇ ಪ್ರಭು' ಎಂದೆಲ್ಲರಿಗೆ ಅರಿಕೆ ಮಾಡುವರು ಪಿತದೇವನ ಮಹಿಮೆಯನು ಈ ಪರಿ ಹೊಗಳಿ ಸಾರುವರವರು.

ಕೀರ್ತನೆ: 22:26-27, 28-30, 31-32

ಶ್ಲೋಕ: ಪ್ರಭೂ, ನೀನೇ ಸ್ಫೂರ್ತಿ ತುಂಬು ಸಭೆಯಲಿ ನಾ ಮಾಳ್ಪ ಸ್ತುತಿಗೆ

1.  ಪ್ರಭೂ, ತುಂಬು ಸಭೆಯಲಿ ನಾ ಮಾಳ್ವ ಸ್ತುತಿಗೆ  ನೀನೇ ಸ್ಪೂರ್ತಿ|
ಭಕ್ತ ಜನರ ಮುಂದೆ ನಾ ಸಲ್ಲಿಸುವೆ, ನಿನಗೆ ಹೊತ್ತ ಹರಕೆ||
ಹರಿವುದು ಸ್ತುತಿ ಭಕ್ತರ ಬಾಯಿಂದ; ತುಂಬುವುದು ದಲಿತರುದರ|
ಇರಲಿ ಚೈತನ್ಯಭರಿತ ನಿಮ್ಮಂತರಂಗವು ನಿರಂತರ||
ಶ್ಲೋಕ

2.  ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುವಿಗೆ|
ಸಾಷ್ಟಾಂಗವೆರಗುವುವು ಧರೆಯ ಸರ್ವ ಜನಾಂಗಗಳು ಆತನಿಗೆ||
ಪ್ರಭುವಿಗೆ ಸೇರಿದುದು ರಾಜ್ಯಭಾರವೆಲ್ಲವೂ|
ಆತನದೇ ರಾಷ್ಟ್ರಗಳ ಒಡೆತನವೆಲ್ಲವು|
ತಲೆಬಾಗುವರಾತನಿಗೆ ಧರೆಯ ಗರ್ವಿಗಳೆಲ್ಲರು|
ಅಡ್ಡಬೀಳುವರವನಿಗೆ ಮರ್ತ್ಯ ಮಾನವರೆಲ್ಲರು||
ಶ್ಲೋಕ

3.  ವಂದಿಪುದು ಪ್ರಭುವನು ಮುಂದಿನ ಪೀಳಿಗೆ|
ಸಾರುವುದಾತನ ವದಂತಿಯನ್ನು ಜನರಿಗೆ||
ಸಾರುವರು ಮುಂದಿನ ಜನತೆಗುದ್ಧಾರವನು|
ಅರುಹುವರು ಆತನೆಸಗಿದ ಮಹತ್ಕಾರ್ಯವನು||
ಶ್ಲೋಕ

ಘೋಷಣೆ
ಅಲ್ಲೆಲೂಯ, ಅಲ್ಲೆಲೂಯ.
ದೇವರ  ಸಂದೇಶವನ್ನು  ಮನುಷ್ಯರ  ಮಾತುಗಳೆಂದು  ಪರಿಗಣಿಸದೆ | ದೇವರ  ವಾಕ್ಯವೆಂದೇ  ಅರಿತು  ಅಂಗೀಕರಿಸಿರಿ ||
ಅಲ್ಲೆಲೂಯ.


ಶುಭಸಂದೇಶ: ಲೂಕ 14:15-24

ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಯೇಸುಸ್ವಾಮಿ ಹೇಳಿದ್ದನ್ನು ಕೇಳಿ, “ದೇವರ ಸಾಮ್ರಾಜ್ಯದ ಔತಣದಲ್ಲಿ ಭಾಗಿಯಾಗುವವನು ಎಷ್ಟೋ ಧನ್ಯನು!” ಎಂದನು. ಯೇಸು ಅವನಿಗೆ ಈ ಸಾಮತಿ ಹೇಳಿದರು: “ಒಬ್ಬಾತ ಒಂದು ದೊಡ್ಡ ಔತಣವನ್ನೇರ್ಪಡಿಸಿ ಅನೇಕ ಜನರಿಗೆ ಆಹ್ವಾನವಿತ್ತ. ಊಟಕ್ಕೆ ವೇಳೆಯಾದಾಗ, ‘ಈಗ ಎಲ್ಲಾ ಸಿದ್ಧವಾಗಿದೆ ಬನ್ನಿ,’ ಎಂದು ಹೇಳಿ ಆಹ್ವಾನಿತರನ್ನು ಕರೆದುತರಲು ಸೇವಕರನ್ನು ಕಳಿಸಿದ. ಆದರೆ ಆಹ್ವಾನಿತರೆಲ್ಲರೂ ಒಬ್ಬರಾದ ಮೇಲೊಬ್ಬರು ‘ಕ್ಷಮಿಸಬೇಕು,’ ಎಂದು ಹೇಳಲಾರಂಭಿಸಿದರು. ಒಬ್ಬ, ‘ಕ್ಷಮಿಸಬೇಕು, ಒಂದು ಹೊಲ ಕೊಂಡುಕೊಂಡಿದ್ದೇನೆ, ಅಲ್ಲಿಗೆ ಹೋಗಿ ನೋಡಬೇಕಾಗಿದೆ,’ ಎಂದ. ಇನ್ನೊಬ್ಬ, ‘ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸಲು ಹೋಗುತ್ತಿದ್ದೇನೆ. ನನ್ನನ್ನು ಕ್ಷಮಿಸಬೇಕು,’ ಎಂದ. ಮತ್ತೊಬ್ಬ, ‘ನನಗೆ ಈಗ ತಾನೆ ಮದುವೆ ಆಗಿದೆ, ಬರುವುದಕ್ಕಾಗುವುದಿಲ್ಲ,’ ಎಂದನು. “ಆ ಸೇವಕನು ಬಂದು ಯಜಮಾನನಿಗೆ ಹಾಗೆಯೇ ವರದಿ ಮಾಡಿದ. ಇದನ್ನು ಕೇಳಿ ಯಜಮಾನನಿಗೆ ರೋಷಬಂದಿತು. ಅವನು ಸೇವಕನಿಗೆ, ‘ಪಟ್ಟಣದ ಹಾದಿಬೀದಿಗಳಿಗೂ ಸಂದುಗೊಂದುಗಳಿಗೂ ಹೋಗಿ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆದುಕೊಂಡು ಬಾ,’ ಎಂದು ಆಜ್ಞೆಮಾಡಿದ. ಸೇವಕನು ಬಂದು, ‘ಸ್ವಾಮೀ, ನಿಮ್ಮ ಆಜ್ಞೆಯಂತೆ ಮಾಡಿದ್ದಾಯಿತು; ಆದರೆ ಇನ್ನೂ ಸ್ಥಳವಿದೆ,’ ಎಂದು ಹೇಳಿದ. ಅದಕ್ಕೆ ಯಜಮಾನ ‘ಹಾಗಾದರೆ ಹಳ್ಳಿಹಾದಿಗಳಿಗೂ ಎಲ್ಲೆ ಬೇಲಿಗಳವರೆಗೂ ಹೋಗಿ ಕಂಡಕಂಡವರನ್ನು ಒತ್ತಾಯ ಮಾಡಿ ಕರೆದುಕೊಂಡು ಬಾ. ನನ್ನ ಮನೆ ತುಂಬಿಹೋಗಲಿ. ಆದರೆ ಮೊದಲು ಆಹ್ವಾನಿತರಾದವರಲ್ಲಿ ಒಬ್ಬನೂ ನಾನು ಮಾಡಿಸಿದ ಅಡುಗೆಯ ರುಚಿ ನೋಡಬಾರದು!' ಎಂದು ಸ್ಪಷ್ಟಪಡಿಸಿದ". 

Sunday, November 1, 2026

02.11.2026 - ಆದರೆ ನಾವಿನ್ನೂ ಪಾಪಿಗಳಾಗಿರುವಾಗಲೇ ಕ್ರಿಸ್ತಯೇಸು ನಮಗೋಸ್ಕರ ಪ್ರಾಣತ್ಯಾಗ ಮಾಡಿದರು.

 ಮೊದಲನೇ ವಾಚನ: ಜ್ಞಾನಗ್ರಂಥ 3:1-9 


ಸಜ್ಜನರ ಆತ್ಮಗಳಿರುವುವು ದೇವರ ಕೈಯೊಳು ಅವರನ್ನು ಮುಟ್ಟದು ಮಹಾಯಾತನೆ ಯಾವುದೂ. ಮಂದಮತಿಯ ಕಣ್ಣಿಗೆ ಸತ್ತವರಂತೆ ಅವರು ಕಾಣಿಸಿಕೊಂಡರು ಅವರು ಗತಿಸಿಹೋದುದು ಅವನಿಂದ ತೊಲಗಿದ ಕೇಡಂತಿತ್ತು. ಸಜ್ಜನರಿಗಾದ ಸಾವು ಮಹಾ ವಿಪತ್ತು ಎಂದವನಿಗೆ ತೋರಿತು. ಅವರಾದರೋ ಶಾಂತಿ ಸಮಾಧಾನದಿಂದ ನೆಮ್ಮದಿಯಾಗಿರುವರು. ಮಾನವನ ದೃಷ್ಟಿಯಲ್ಲಿ ಅವರು ಕಂಡು ಬಂದರು ಶಿಕ್ಷಿಸಲ್ಪಟ್ಟವರಂತೆ ಅವರಲ್ಲಾದರೋ ತುಂಬಿತ್ತು ಅಮರತ್ವದ ನಂಬಿಕೆ ನಿರೀಕ್ಷೆ, ಅವರು ಅನುಭವಿಸಿದ ಶಿಕ್ಷೆ ಅಲ್ಪ, ಹೊಂದುವ ಸೌಭಾಗ್ಯ ಅಪಾರ. ಶೋಧಿಸಿದ ತರುವಾಯ ದೇವರಿಗೆ ಅವರು ಕಂಡು ಬಂದರು ಯೋಗ್ಯಾರ್ಹ. ಶೋಧಿಸಿದರವರನು ಪುಟಕ್ಕಿಟ್ಟ ಚಿನ್ನದಂತೆ, ಅಂಗೀಕೃತರಾದರು ಪೂರ್ಣ ದಹನ ಬಲಿಯಂತೆ. ಪ್ರಕಾಶಿಸುವರು ದೇವರನು ಸಂದರ್ಶಿಸುವ ಕಾಲದಲ್ಲಿ ಹೊಳೆಯುವರು ಒಣ ಹುಲ್ಲಿನೊಳಗಿನ ಕಿಡಿಗಳೋಪಾದಿ. ನ್ಯಾಯ ತೀರಿಸುರವರು ಜನಾಂಗಗಳಿಗೆ ದೊರೆತನ ಮಾಡುವರವರು ಜನಗಳ ಮೇಲೆ ದೇವರ ಪ್ರಜೆಗಳಾಗಿರುವರು ಸದಾಕಾಲಕ್ಕೆ. ಸತ್ಯವನ್ನು ಅರಿವರು ದೇವರಲ್ಲಿ ಭರವಸಯಿಡುವವರು ಅವರೊಂದಿಗೆ ಪ್ರೀತಿಯಿಂದ ಬಾಳುವರು ನಂಬಿಗಸ್ತರು. ದೇವರಿಂದ ಆಯ್ಕೆಯಾದವರಿಗಿರುವುದು ಕೃಪಾನುಗ್ರಹವು ದೇವರೇ ಕಾಪಾಡುವರು ಸಜ್ಜನರನು .

ಕೀರ್ತನೆ: 23:1-3, 3-4, 5, 6 

ಶ್ಲೋಕ:, ಪ್ರಭು ಕುರಿಗಾಹಿಯಾಗಿರಲು ನನಗೆ ಕುಂದುಕೊರತೆಗಳೆಲ್ಲಿಯವು ಎನಗೆ? 

1.  ಪ್ರಭು ಕುರಿಗಾಹಿಯಾಗಿರಲು ನನಗೆ| ಕುಂದುಕೊರತೆಗಳೆಲ್ಲಿಯವು ಎನಗೆ ?||
ಹಸಿರುಗಾವಲುಗಳಲೆನ್ನ ತಂಗಿಸುವನು|
ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು|
ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ||
ಶ್ಲೋಕ

2.  ಸನ್ಮಾರ್ಗದಲ್ಲಿ ನಡೆಸುವನು ತನ್ನ ನಾಮನಿಮಿತ್ತ|
ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು ಅಂಜೆನು ಕೇಡಿಗೆ||
ಶ್ಲೋಕ

3.  ನಿನ್ನ ಕುರಿಗೋಲು, ಊರುಗೋಲು|
ದೈರ್ಯವನು ತರುವುದೆನಗೆ||
ಕಾಣೆನೆಂದಿಗೂ ನಾ ದಿಗಿಲನು|
ನೀನಿರಲು ನನ್ನೊಂದಿಗೆ||
ಶ್ಲೋಕ

ಪೌಲನು ರೋಮನರಿಗೆ ಬರೆದ ಪತ್ರದಿಂದ ಇಂದಿನ ಎರಡನೆಯ ವಾಚನ 5:5-11




  ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವೋಗುವುದಿಲ್ಲ.  ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.  ನಾವು ಪಾಪದಿಂದ ದುರ್ಬಲರಾಗಿದ್ದಾಗಲೇ ನಿಯಮಿತ ಕಾಲದಲ್ಲಿ ಕ್ರಿಸ್ತಯೇಸು ಪಾಪಿಗಳಿಗೋಸ್ಕರ ಪ್ರಾಣತ್ಯಾಗ ಮಾಡಿದರು.  ನೀತಿವಂತನಿಗಾಗಿ ಒಬ್ಬನು ತನ್ನ ಪ್ರಾಣ ಕೊಡುವುದು ವಿರಳ.  ಸತ್ಪುರುಷನಿಗಾಗಿ ಒಬ್ಬನು ತನ್ನ ಪ್ರಾಣವನ್ನು ಕೊಟ್ಟರೂ ಕೊಟ್ಟಾನು.  ಆದರೆ ನಾವಿನ್ನೂ ಪಾಪಿಗಳಾಗಿರುವಾಗಲೇ ಕ್ರಿಸ್ತಯೇಸು ನಮಗೋಸ್ಕರ ಪ್ರಾಣತ್ಯಾಗ ಮಾಡಿದರು.  ಇದರಿಂದ ನಮ್ಮ ಮೇಲೆ ದೇವರಿಗಿರುವ ಪ್ರೀತಿ ಎಷ್ಟೆಂದು ವ್ಯಕ್ತವಾಗುತ್ತದೆ.  ಕ್ರಿಸ್ತಯೇಸುವಿನ ರಕ್ತಧಾರೆಯಿಂದ ನಾವೀಗ ದೇವರೊಡನೆ ಸತ್ಸಂಬಂಧದಲ್ಲಿದ್ದೇವೆ.  ಹೀಗಿರಲಾಗಿ, ಬರಲಿರುವ ದೈವ ಕೋಪಾಗ್ನಿಯಿಂದ ಯೇಸುಕ್ರಿಸ್ತರ ಮುಖಾಂತರವೇ ಪಾರಾಗುತ್ತೇವೆ ಎಂಬುದು ಮತ್ತಷ್ಟು ನಿಶ್ಚಯವಲ್ಲವೆ?  ನಾವು ದೇವರಿಗೆ ಶತ್ರುಗಳಾಗಿದ್ದರೂ ಅವರು ತಮ್ಮ ಮಗನ ಮರಣದ ಮೂಲಕ ನಮ್ಮನ್ನು ತಮ್ಮೊಡನೆ ಸಂಧಾನಗೊಳಿಸಿ ಮಿತ್ರರನ್ನಾಗಿ ಮಾಡಿಕೊಂಡರು.  ನಾವೀಗ ದೇವರ ಮಿತ್ರರಾಗಿರುವುದರಿಂದ, ಕ್ರಿಸ್ತ ಯೇಸುವಿನ ಜೀವದ ಮೂಲಕ ಉದ್ಧಾರ ಹೊಂದುತ್ತೇವೆ ಎಂಬುದು ಮತ್ತಷ್ಟು ಖಚಿತವಲ್ಲವೇ?  ಅಷ್ಟೇ ಅಲ್ಲದೆ, ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರು ನಮ್ಮನ್ನು ಮಿತ್ರರನ್ನಾಗಿಸಿರುವುದರಿಂದ ಅವರ ಮೂಲಕವೇ ನಾವು ದೇವರಲ್ಲಿ ಹೆಮ್ಮೆಪಡುತ್ತೇವೆ.

ಪ್ರಭುವಿನ ವಾಕ್ಯ
ದೇವರಿಗೆ ಕೃತಜ್ಞತೆ ಸಲ್ಲಲಿ

ಘೋಷಣೆ
(ಪ್ರಕಟನಾ 1:5,6,)

ಅಲ್ಲೆಲೂಯ, ಅಲ್ಲೆಲೂಯ!
ದುಡಿದು ಭಾರಹೊತ್ತು ಬಳಲಿ ಬೆಂಡಾಗಿರುವ ಸರ್ವಜನರೇ | ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿ ನೀಡುತ್ತೇನೆ||
ಅಲ್ಲೆಲೂಯ!

ಶುಭಸಂದೇಶ : ಯೊವಾನ್ನನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 6:37-40

ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ, ಪಿತನು ನನಗೆಂದು ಕೊಟ್ಟಿರುವ ಪ್ರತಿಯೊಬ್ಬನೂ ನನ್ನಲ್ಲಿಗೆ ಬರುತ್ತಾನೆ.  ನನ್ನಲ್ಲಿಗೆ ಬರುವವನನ್ನು ನಾನೆಂದಿಗೂ ತಳ್ಳಿಬಿಡುವುದಿಲ್ಲ.  ನಾನು ಸ್ವರ್ಗದಿಂದ ಇಳಿದು ಬಂದುದು ನನ್ನ ಇಚ್ಛೆಯಂತೆ ನಡೆಯುವುದಕ್ಕಲ್ಲ.  ನನ್ನನ್ನು ಕಳುಹಿಸಿದಾತನ ಚಿತ್ತದಂತೆ ನಡೆಯುವುದಕ್ಕೆ. ಅವರ ಚಿತ್ತವೇನೆಂದರೆ:
ಅವರು ನನಗೆ ಕೊಟ್ಟವರಲ್ಲಿ ಒಬ್ಬನನ್ನೂ ಕಳೆದುಕೊಳ್ಳದೆ ಅಂತಿಮ ದಿನದಂದು ಅವರೆಲ್ಲರನ್ನೂ ನಾನು ಜೀವಕ್ಕೆ ಎಬ್ಬಿಸಬೇಕು.  ಪುತ್ರನನ್ನು ಕಂಡು ಆತನಲ್ಲಿ ವಿಶ್ವಾಸ ಇಡುವ ಪ್ರತಿಯೊಬ್ಬನೂ ನಿತ್ಯಜೀವ ಪಡೆಯಬೇಕೆಂಬುದೇ ನನ್ನ ಪಿತನ ಸಂಕಲ್ಪ.  ಅಂಥವನನ್ನು ಅಂತಿಮ ದಿನದಂದು ನಾನು ಜೀವಕ್ಕೆ ಎಬ್ಬಿಸುತ್ತೇನೆ "ಎಂದು ನುಡಿದರು.

ಪ್ರಭುವಿನ ಶುಭಸಂದೇಶ
ಕ್ರಿಸ್ತರೇ ನಿಮಗೆ ಸ್ತುತಿ ಸಲ್ಲಲಿ