18.02.10 -"ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ"

ಸಂತ ಲೂಕನು ಬರೆದ ಶುಭ ಸಂದೇಶದಿಂದ ವಾಚನ - 9:22-25

ಒಬ್ಬನು ಪ್ರಪಂಚವನ್ನೆಲ್ಲಾ ಗೆದ್ದುಕೊಂಡು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅಥವಾ ತೆತ್ತರೆ ಅವನಿಗೆ ಅದರಿಂದ ಬರುವ ಲಾಭವಾದರೂ ಏನು?

ಯೇಸು ಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು:"ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ.ಸಭಾ ಪ್ರಮುಖರಿಂದಲೂ ಮುಖ್ಯ ಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು. ಆದರೆ ಮೂರನೆಯ ದಿನ ಆತನು ಪುನರುತ್ಥಾನ ಹೊಂದುವನು," ಎಂದು ಅವರಿಗೆ ತಿಳಿಸಿದರು.

ಯೇಸುಸ್ವಾಮಿ ಎಲ್ಲರನ್ನೂ ನೋಡಿ ಹೇಳಿದ್ದೇನೆಂದರೆ:"ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ,ಅವನು ತನ್ನನ್ನು ತಾನೇ ಪರಿತ್ಯಜಿಸಿ,ತನ್ನ ಶಿಲುಬೆಯನ್ನು ಅನುದಿನವೂ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಿಸಲಿ.ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು.ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು.ಒಬ್ಬನು ಪ್ರಪಂಚವನ್ನೆಲ್ಲಾ ಗೆದ್ದುಕೊಂಡು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅಥವಾ ತೆತ್ತರೆ ಅವನಿಗೆ ಅದರಿಂದ ಬರುವ ಲಾಭವಾದರೂ ಏನು?

16.02.10 - ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ

ಸಂತ ಮಾರ್ಕನು ಬರೆದ ಶುಭ ಸಂದೇಶದಿಂದ ವಾಚನ - 8:14-21

"ಕಿವಿಗಳಿದ್ದೂ ಕೇಳಲಾರಿರಾ? ಕಣ್ಣುಗಳಿದ್ದೂ ನೋಡಲಾರಿರಾ?"

ಶಿಷ್ಯರು ಬುತ್ತಿಯನ್ನು ಕಟ್ಟಿಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಒಂದೇ ಒಂದು ರೊಟ್ಟಿಯಿತ್ತು. ಯೇಸುಸ್ವಾಮಿ ಅವರಿಗೆ. " ಎಚ್ಚರಿಕೆ, ಫರಿಸಾಯರ ಹಾಗೂ ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ," ಎಂದು ಹೇಳಿದರು. ಇದನ್ನು ಕೇಳಿದ ಶಿಷ್ಯರು,’ ನಮ್ಮಲ್ಲಿ ರೊಟ್ಟಿಯಿಲ್ಲದ್ದರಿಂದ ಹೀಗೆ ಹೇಳುತ್ತಿರಬಹುದೇ" ಎಂದು ಚರ್ಚಿಸತೊಡಗಿದರು. ಆ ಚರ್ಚೆಯನ್ನು ಯೇಸು ಗಮನಿಸಿ, ರೊಟ್ಟಿ ಇಲ್ಲವೆಂದು ಚರ್ಚೆ ಏಕೆ? ನಿಮಗೆ ಇನ್ನೂ ಅರಿವಾಗಲಿ, ಗ್ರಹಿಕೆಯಾಗಲಿ ಇಲ್ಲವೇ? ನೀವಿನ್ನೂ ಮಂದಮತಿಗಳಾಗಿರುವಿರೋ? ಕಿವಿಗಳಿದ್ದೂ ಕೇಳಲಾರಿರಾ? ಕಣ್ಣುಗಳಿದ್ದೂ ನೋಡಲಾರಿರಾ? ನಾನು ಐದು ರೊಟ್ಟಿಗಳಿಂದ ಐದು ಸಾವಿರ ಜನರನ್ನು ತೃಪ್ತಿ ಪಡಿಸಿದಾಗ ಉಳಿದ ರೊಟ್ಟಿಯ ತುಂಡುಗಳನ್ನು ಎಷ್ಟು ಬುಟ್ಟಿ ತುಂಬ ಒಟ್ಟುಗೂಡಿಸಿದಿರಿ? ನಿಮಗೆ ಜ್ಞಾಪಕವಿಲ್ಲವೇ?" ಎಂದು ಕೇಳಿದರು. "ಹನ್ನೆರಡು ಬುಟ್ಟಿಗಳು" ಎಂದು ಅವರು ಉತ್ತರವಿತ್ತರು.

"ಅಲ್ಲದೆ ನಾನು ಏಳು ರೊಟ್ಟಿಗಳಿಂದ ನಾಲ್ಕು ಸಾವಿರ ಜನರನ್ನು ತೃಪ್ತಿಪಡಿಸಿದಾಗ ಎಷ್ಟು ಕುಕ್ಕೆ ತುಂಬ ರೊಟ್ಟಿಯ ತುಂಡುಗಳನ್ನು ಒಟ್ಟುಗೂಡಿಸಿದಿರಿ?" ಎಂದು ಪುನ: ಅವರನ್ನು ಕೇಳಲು," ಏಳು ಕುಕ್ಕೆಗಳು,’ ಎಂದರು. ಆಗ ಯೇಸು," ಇಷ್ಟಾದರೂ ನಿಮಗಿನ್ನೂ ತಿಳುವಳಿಕೆ ಇಲ್ಲವೆ?" ಎಂದರು.

15.02.10 - "ಒಂದು ಅದ್ಭುತವನ್ನು ಮಾಡಿ ತೋರಿಸು"

ಸಂತ ಮಾರ್ಕನು ಬರೆದ ಶುಭ ಸಂದೇಶದಿಂದ ವಾಚನ - 8:11-13

"ಈ ಪೀಳಿಗೆ ಅದ್ಭುತವನ್ನು ಸಂಕೇತವಾಗಿ ಅಪೇಕ್ಷಿಸುವುದೇಕೆ?"

ಫರಿಸಾಯರು ಯೇಸುಸ್ವಾಮಿಯ ಬಳಿಗೆ ಬಂದು, ಅವರೊಡನೆ ತರ್ಕಮಾಡಿ, ಅವರನ್ನು ಪರೀಕ್ಷಿಸುವ ಉದ್ದೇಶದಿಂದ:" ನೀನು ದೇವರಿಂದ ಬಂದವನೆಂಬುದನ್ನು ಸೂಚಿಸಲು ಒಂದು ಅದ್ಭುತವನ್ನು ಮಾಡಿ ತೋರಿಸು," ಎಂದು ಕೇಳಿದರು. ಇದನ್ನು ಕೇಳಿ ಯೇಸು, ಮನಸ್ಸಿನಲ್ಲಿ ನೊಂದುಕೊಂಡು, ನಿಟ್ಟುಸಿರಿಟ್ಟು,"ಈ ಪೀಳಿಗೆ ಅದ್ಭುತವನ್ನು ಸಂಕೇತವಾಗಿ ಅಪೇಕ್ಷಿಸುವುದೇಕೆ? ಇದಕ್ಕೆ ಅಂಥ ಯಾವ ಸಂಕೇತವನ್ನು ಕೊಡಲಾಗದು, ಇದು ಖಂಡಿತ," ಎಂದರು. ಅನಂತರ ಯೇಸು ಅವರನು ಬಿಟ್ಟು, ದೋಣಿಯನ್ನು ಹತ್ತಿ ಸರೋವರದ ಆಚೆದಡಕ್ಕೆ ಹೊರಟು ಹೋದರು.

14.02.10 - ಅಷ್ಟ ಭಾಗ್ಯಗಳು

ಸಂತ ಲೂಕನು ಬರೆದ ಶುಭಸಂದೇಶದಿಂದ ವಾಚನ  - 6: 17,20-26

"ದೀನ ದಲಿತರೇ, ನೀವು ಭಾಗ್ಯವಂತರು! ದೇವರ ಸಾಮ್ರಾಜ್ಯ ನಿಮ್ಮದು."

ಅನಂತರ ಯೇಸುಸ್ವಾಮಿ ಅವರೊಂದಿಗೆ ಬೆಟ್ಟದಿಂದ ಇಳಿದು, ಸಮತಟ್ಟಾದ ಸ್ಥಳಕ್ಕೆ ಬಂದರು. ಶಿಷ್ಯರ ದೊಡ್ಡ ಗುಂಪು ಅಲ್ಲಿ ನೆರದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಸಮುದ್ರ ತೀರದ ಟೈರ್ ಹಾಗೂ ಸಿದೋನ್ ಪಟ್ಟಣಗಳಿಂದಲೂ ಜನಸಮೂಹ ಅಲ್ಲಿಗೆ ಬಂದಿತ್ತು. ಯೇಸುಸ್ವಾಮಿ ತಮ್ಮ ಶಿಷ್ಯರ ಕಡೆಗೆ ದೃಷ್ಟಿಸಿ ನೋಡಿ ಹೀಗೆಂದು ಬೋಧಿಸಿದರು: “ದೀನ ದಲಿತರೇ, ನೀವು ಭಾಗ್ಯವಂತರು! ದೇವರ ಸಾಮ್ರಾಜ್ಯ ನಿಮ್ಮದು. ಈಗ ಹಸಿದಿರುವವರೇ, ನೀವು ಭಾಗ್ಯವಂತರು! ನಿಮಗೆ ಸಂತೃಪ್ತಿಯಾಗುವುದು. ಈಗ ಅತ್ತು ಗೋಳಾಡುವವರೇ, ನೀವು ಭಾಗ್ಯವಂತರು! ನೀವು ನಕ್ಕುನಲಿದಾಡುವಿರಿ.! ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ,ಬಹಿಷ್ಕರಿಸಿ,ಧಿಕ್ಕರಿಸಿ ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸಿದಾಗ ನೀವು ಭಾಗ್ಯವಂತರು! ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದ್ದರು.

ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡಿರಿ. ಏಕೆಂದರೆ, ಸ್ವರ್ಗದಲ್ಲಿ ನಿಮಗೆ ಲಭಿಸುವ ಪ್ರತಿಫಲ ಮಹತ್ತರವಾದುದು.: ಆದರೆ ಧನಿಕರೇ, ನಿಮಗೆ ಧಿಕ್ಕಾರ! ನೀವು ಸುಖಜೀವನವನ್ನು ಅನುಭವಿಸಿಯಾಗಿದೆ. ಈಗ ತಿಂದು ತೃಪ್ತಿಯಾಗಿರುವವರೇ, ನಿಮಗೆ ಧಿಕ್ಕಾರ! ನೀವು ಹಸಿದು ಬಳಲುವಿರಿ.ಈಗ ನಕ್ಕುನಲಿದಾಡುವವರೇ, ನಿಮಗೆ ಧಿಕ್ಕಾರ! ನೀವು ದು:ಖಿಸಿ ಗೋಳಾಡುವಿರಿ. ಜನರೆಲ್ಲರಿಂದ ಹೊಗಳಿಸಿಕೊಳ್ಳುವಾಗ ನಿಮಗೆ ಧಿಕ್ಕಾರ! ಕಪಟ ಪ್ರವಾದಿಗಳೂ ಈ ಜನರ ಪೂರ್ವಜರಿಂದ ಹೀಗೆಯೇ ಹೊಗಳಿಸಿಕೊಂಡಿದ್ದರು.

13.02.08 - “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?”

ಸಂತ ಮಾರ್ಕನು ಬರೆದ ಶುಭಸಂದೇಶದಿಂದ ವಾಚನ  - 8: 1-10


 ಜನರೆಲ್ಲರೂ ಉಂಡು ತೃಪ್ತರಾದರು.


ಜನರು ಪುನ: ದೊಡ್ಡ ಸಂಖ್ಯೆಯಲ್ಲಿ ಬಂದು ನೆರದಿದ್ದರು. ಊಟ ಮಾಡಲು ಅವರಲ್ಲಿ ಆಹಾರವಿರಲಿಲ್ಲ.ಆಗ ಯೇಸುಸ್ವಾಮಿ ಶಿಷ್ಯರನ್ನು ಕರೆದು” ಈ ಜನರು ಕಳೆದ ಮೂರು ದಿನಗಳಿಂದಲೂ ನನ್ನ ಬಳಿ ಇದ್ದಾರೆ; ಊಟಕ್ಕೆ ಇವರಲ್ಲಿ ಏನೂ ಇಲ್ಲ. ಇವರನ್ನು ಕಂಡಾಗ ನನ್ನ ಹೃದಯ ಕರಗುತ್ತದೆ. ಬರೀ ಹೊಟ್ಟೆಯಲಿ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು.ಕೆಲವರಂತೂ ಬಹುದೂರದಿಂದ ಬಂದಿದ್ದಾರೆ,” ಎಂದರು. ಅದಕ್ಕೆ ಶಿಷ್ಯರು “ಇಷ್ಟು ದೊಡ್ಡ ಗುಂಪಿಗೆ ಆಗುವಷ್ಟು ರೊಟ್ಟಿಯನ್ನು ಈ ಅಡವಿಯಲ್ಲಿ ನಾವು ತರುವುದಾದರೂ ಎಲ್ಲಿಂದ? ಎಂದು ಮರುನುಡಿದರು. ಯೇಸು “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಲು ಅವರು,” ಏಳು ಇವೆ,” ಎಂದರು. ಯೇಸು ಜನರ ಗುಂಪಿಗೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಆಜ್ಞಾಪಿಸಿದರು. ಅನಂತರ ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಸಲ್ಲಿಸಿ,ಅವುಗಳನ್ನು ಮುರಿದು, ಜನರ ಗುಂಪಿಗೆ ಬಡಿಸಲು ಶಿಷ್ಯರಿಗೆ ಕೊಟ್ಟರು. ಅವರು ಬಡಿಸಿದರು.ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು. ಯೇಸು ಅವುಗಳಿಗೆ ದೇವಸ್ತುತಿಮಾಡಿ ಅವುಗಳನ್ನು ಹಂಚಬೇಕೆಂದು ಆಜ್ಞಾಪಿಸಿದರು. ಜನರೆಲ್ಲರೂ ಉಂಡು ತೃಪ್ತರಾದರು. ಉಳಿದ ರೊಟ್ಟಿಯ ತುಂಡುಗಳನ್ನು ಒಟ್ಟುಗೂಡಿಸಿದಾಗ. ಅವು ಏಳು ಕುಕ್ಕೆಗಳ ತುಂಬ ಆದವು. ಊಟ ಮಾಡಿದವರ ಸಂಖ್ಯೆಯ  ನಾಲ್ಕು ಸಾವಿರ. ಊಟವಾದ ಬಳಿಕ ಯೇಸು ಜನರನ್ನು ಕಳುಹಿಸಿಕೊಟ್ಟು ವಿಳಂಬ ಮಾಡದೆ ದೋಣಿಯನ್ನು ಹತ್ತಿ, ಶಿಷ್ಯರೊಡನೆ ದಲ್ಮನೂಥ ಎಂಬ ಪ್ರದೇಶಕ್ಕೆ ಹೋದರು.

12.02.10 - 'ಎಪ್ಪಥಾ’ಎಂದರೆ ತೆರೆಯಲಿ ಎಂದರು

ಸಂತ ಮಾರ್ಕನು ಬರೆದ ಶುಭ ಸಂದೇಶದಿಂದ ವಾಚನ - 7:31-37

ಇವರು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ;ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರಲ್ಲಾ!"
ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಸಿದೋನಿನ ಮಾರ್ಗವಾಗಿ ದೆಕಪೋಲಿ ಪ್ರದೇಶವನ್ನು ಹಾದು ಗಲಿಲೇಯ ಸರೋವರದ ತೀರಕ್ಕೆ ಹಿಂದಿರುಗಿದರು.ಮಾತನಾಡಲಾಗದ ಒಬ್ಬ ಕಿವುಡನನ್ನು ಜನರು ಅವರ ಬಳಿಗೆ ಕರೆತಂದರು.ಅವನ ಮೇಲೆ ಕೈಗಳನ್ನಿಡಬೇಕೆಂದು ಬೇಡಿಕೊಂಡರು. ಯೇಸು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದೊಯ್ದು, ತಮ್ಮ ಬೆರಳುಗಳನ್ನು ಅವನ ಕಿವಿಯೊಳಗೆ ಇಟ್ಟರು. ತಮ್ಮ ಉಗುಳಿನಿಂದ ಅವನ ನಾಲಗೆಯನ್ನು ಮುಟ್ಟಿದರು.ಬಳಿಕ ಸ್ವರ್ಗದತ್ತ ಕಣ್ಣೆತ್ತಿ ನೋಡಿ, ದೀರ್ಘವಾಗಿ ಉಸಿರೆಳೆದು.'ಎಪ್ಪಥಾ’ಎಂದರೆ ತೆರೆಯಲಿ ಎಂದರು.ತಕ್ಷಣವೇ ಅವನ ಕಿವಿಗಳು ತೆರೆದವು; ನಾಲಗೆಯ ಬಿಗಿ ಸಡಿಲಗೊಂಡಿತು;ಅವನು ಸರಾಗವಾಗಿ ಮಾತನಾಡತೊಡಗಿದನು. ಇದನ್ನು ಯಾರಿಗೂ ಹೇಳಕೂಡದೆಂದು ಯೇಸು ಜನರಿಗೆ ಕಟ್ಟಪ್ಪಣೆ ಮಾಡಿದರು.ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಆಸಕ್ತಿಯಿಂದ ಈ ಕಾರ್ಯವನ್ನು ಪ್ರಚಾರ ಮಾಡಿದರು.ಎಲ್ಲರೂ ಆಶ್ಚರ್ಯಭರಿತರಾಗಿ," ಇವರು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರಲ್ಲಾ!" ಎಂದುಕೊಳ್ಳುತ್ತಿದ್ದರು.

ಲೂರ್ದು ಮಾತೆಯ ಹಬ್ಬ


ಭೂಲೋಕದ ಅತೃಪ್ತಿಯನ್ನು ವ್ಯಕ್ತಪಡಿಸಲು 
ನಿರ್ಜನ ಪ್ರದೇಶದಲ್ಲಿ ದರ್ಶನವಿತ್ತ 
ಲೂರ್ದು ಮಾತೆಯೇ
 ನಮಗಾಗಿ ಪ್ರಾರ್ಥಿಸಿ

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...