02.06.10 - ಪುನರುತ್ಥಾನ

ಸಂತ ಮಾರ್ಕನ ಶುಭ ಸಂದೇಶ - 12: 18-27

"ಅವರು ಸ್ವರ್ಗದ ದೇವದೂತರಂತೆ ಇರುತ್ತಾರೆ"

ಅನಂತರ ಸದ್ದುಕಾಯರು ಯೇಸುಸ್ವಾಮಿಯ ಬಳಿಗೆ ಬಂದರು.ಸತ್ತ ಮೇಲೆ ಪುನರುತ್ಥಾನ ಇಲ್ಲವೆಂಬುದು ಅವರ ಅಭಿಮತ. ಇವರು ಯೇಸುವನ್ನು" ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು ಎಂದು ಮೋಶೆ ನಮಗೆ ಬರೆದಿಟ್ಟಿದ್ದಾನಲ್ಲವೇ? ಒಮ್ಮೆ ಏಳು ಮಂದಿ ಅಣ್ಣ ತಮ್ಮಂದಿರಿದ್ದರು.ಅವರಲ್ಲಿ ಮೊದಲನೆಯವನಿಗೆ ವಿವಾಹವಾಯಿತು.ಅವನು ಮಕ್ಕಳಿಲ್ಲದೆ ಮೃತನಾದುದರಿಂದ ಎರಡನೆಯವನು ಅವನ ಹೆಂಡತಿಯನ್ನು ಮುದುವೆ ಮಾಡಿಕೊಂಡು, ಸಂತಾನವಿಲ್ಲದೆ ಸಾವನಪ್ಪಿದ . ಮೂರನೆಯವನಿಗೂ ಇದೇ ಗತಿಯಾಯಿತು. ಅನಂತರ,ಉಳಿದವರೂ ಒಬ್ಬರ ಬಳಿಕ ಇನ್ನೊಬ್ಬರು ಆಕೆಯನ್ನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತುಹೋದರು. ಕಡೆಗೆ ಆ ಸ್ತ್ರೀಯೂ ಮರಣ ಹೊಂದಿದಳು. ಈಗ ಹೇಳಿ,ಪುನರುತ್ಥಾನ ದಿನದಲ್ಲಿ, ಆಕೆ ಯಾರ ಹೆಂಡತಿ ಎನಿಸಿಕೊಳ್ಳುವಳು?ಏಳು ಮಂದಿ ಸಹೋದರರೂ ಆಕೆಯನ್ನು ವಿವಾಹವಾಗಿದ್ದರಲ್ಲವೇ?" ಎಂದು ಪ್ರಶ್ನಿಸಿದರು. ಅದಕ್ಕೆ ಯೇಸು,"ನಿಮ್ಮದು ಎಂಥಾ ತಪ್ಪು ಅಭಿಪ್ರಾಯ!ಪವಿತ್ರ ಗಂಥವನ್ನಾಗಲೀ,ದೇವರ ಶಕ್ತಿಯನ್ನಾಗಲೀ,ನೀವು ಅರ್ಥಮಾಡಿಕೊಂಡಿಲ್ಲ. ಸತ್ತವರು ಪುನರುತ್ಥಾನವಾದ ಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ,ಮಾಡಿಕೊಡುವುದೂ ಇಲ್ಲ.ಅವರು ಸ್ವರ್ಗದ ದೇವದೂತರಂತೆ ಇರುತ್ತಾರೆ.ಇದಲ್ಲದೆ ಸತ್ತವರು ಪುನರುತ್ಥಾನವಾಗುವ ವಿಷಯದಲ್ಲಿ ಹೇಳುವುದಾದರೆ:’ನಾನು ಅಬ್ರಹಾಮನಿಗೆ ದೇವರು,ಇಸಾಕನಿಗೆ ದೇವರು,ಯಾಕೋಬನಿಗೆ ದೇವರು’ಎಂದು ದೇವರು ಮೋಶೆಗೆ ಹೇಳಿದ್ದನ್ನು ಮೋಶೆಯ ಗ್ರಂಥ ’ಉರಿಯುವ ಪೊದೆ’ಯ ಪ್ರಸ್ತಾಪವಿರುವ ಭಾಗದಲ್ಲಿ, ನೀವು ಓದಿರಬೇಕಲ್ಲವೇ? ದೇವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ.ನಿಮ್ಮ ಅಭಿಪ್ರಾಯ ತೀರಾ ತಪ್ಪಾಗಿದೆ" ಎಂದರು.

27.05.10 - ದೃಷ್ಟಿ ದಾನ


ಸಂತ ಮಾರ್ಕನು ಬರೆದ ಶುಭಸಂದೇಶ - 10:46-52

”ಹೋಗು, ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಮಾಡಿದೆ”

ಯೇಸುಸ್ವಾಮಿ ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟನವನ್ನ್ನು ತಲುಪಿದರು. ಅಲ್ಲಿಂದ ಹೊರಡುವಾಗ ಜನರ ದೊಡ್ಡ ಗುಂಪು ಅವರನ್ನು ಹಿಂಬಾಲಿಸಿತು. ಕುರುಡು ಭಿಕ್ಷುಗಾರನಾದ, ತಿಮಾಯನ ಮಗ ಬಾರ್ತಿಮಾಯನು ದಾರಿಯ ಮಗ್ಗುಲಲ್ಲಿ ಕುಳಿತಿದ್ದನು. ಆ ಮಾರ್ಗವಾಗಿ ಹೋಗುತ್ತಿರುವಾತನು ನಜರೇತಿನ ಯೇಸು ಎಂದು ಕೇಳಿದೊಡನೆಯೇ, ಅವನು “ ಯೇಸುವೇ, ದಾವಿದ ಕುಲಪುತ್ರರೇ, ನನಗೆ ದಯೆತೋರಿ” ಎಂದು ಗಟ್ಟಿಯಾಗಿ ಕೂಗಿಕೊಂಡನು.ಅನೇಕರು “ ಎಂದು ಅವನನ್ನು ಗದರಿಸಿದರು. ಅವನಾದರೋ, “ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಇನ್ನಷ್ಟು ಗಟ್ಟಿಯಾಗಿ ಕೂಗಿಕೊಂಡನು. ಇದನ್ನು ಕೇಳಿ ಯೇಸು ಅಲ್ಲೇ ನಿಂತು,” ಅವನನ್ನು ಕರೆದುಕೊಂಡು ಬನ್ನಿ,” ಎಂದು ಅಪ್ಪಣೆ ಮಾಡಿದರು. ಅವರು ಹೋಗಿ,” ಏಳು, ಭಯ ಪಡಬೇಡ, ಯೇಸು ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಹೇಳಿದರು. ಅವನು ತನ್ನ ಮೇಲು ಹೊದಿಕೆಯನ್ನು ಅಲ್ಲೇ ಬಿಟ್ಟು, ತಟ್ಟನೆ ಎದ್ದು, ಯೇಸುವಿನ ಬಳಿಗೆ ಬಂದನು. ಯೇಸು,” ನನ್ನಿಂದ ನಿನಗೆ ಏನಾಗಬೇಕು?” ಎಂದು ಕೇಳಿದರು. ಅದಕ್ಕೆ ಅವನು,”ಗುರುದೇವಾ! ನನಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದನು. ಯೇಸು ಅವನಿಗೆ, ”ಹೋಗು, ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಮಾಡಿದೆ,” ಎಂದರು. ಆಕ್ಷಣವೇ ಅವನಿಗೆ ದೃಷ್ಟಿ ಬಂದಿತು.ಅವನೂ ಯೇಸುವನ್ನು ಹಿಂಬಾಲಿಸಿ ಹಿಂದೆ ಹೋದನು.

25.05.10 - ಅಮರ ಜೀವ

ಸಂತ ಮಾರ್ಕನ ಶುಭ ಸಂದೇಶ - 10: 17-27

"ಮೊದಲನೆಯವರಲ್ಲಿ ಅನೇಕರು ಕಡೆಯವರಾಗುವರು;ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು" 

ಆಗ ಪೇತ್ರನು ಮುಂದೆ ಬಂದು,"ನೋಡಿ, ನಾವು ಎಲ್ಲವನ್ನೂ ಬಿಟ್ಟುಬಿಟ್ಟು ನಿಮ್ಮನ್ನು ಹಿಂಬಾಲಿಸಿದ್ದೇವಲ್ಲ." ಎಂದನು. ಆಗ ಯೇಸು," ನಾನು ನಿಶ್ಚಯವಾಗಿ ಹೇಳುತ್ತೇನೆ; ಯಾರಾದರೂ ನನ್ನ ನಿಮಿತ್ತ ಹಾಗೂ ಶುಭಸಂದೇಶದ ನಿಮಿತ್ತ ಮನೆಯನ್ನಾಗಲಿ,ಅಣ್ಣ ತಮ್ಮಂದಿರನ್ನಾಗಲಿ, ಅಕ್ಕ ತಂಗಿಯರನ್ನಾ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲ ಗದ್ದೆಗಳನ್ನಾಗಲಿ ತ್ಯಜಿಸುತ್ತಾನೋ, ಅವನು ಈ ಕಾಲದಲ್ಲೇ ಮನೆ,ಅಣ್ಣ ತಮ್ಮ. ಅಕ್ಕತಂಗಿ, ತಾಯಿ, ಮಕ್ಕಳು, ಹೊಲ ಗದ್ದೆ ಇವೆಲ್ಲವನ್ನೂ ನೂರ್ಮಡಿಯಷ್ಟು ಪಡೆಯುವನು. ಇವುಗಳೊಂದಿಗೆ ಹಿಂಸೆಯನ್ನೂ ಅನುಭವಿಸಬೇಕಾಗುವುದು;ಅದಲ್ಲದೆ ಮುಂದಿನ ಲೋಕದಲ್ಲಿ ಅಮರ ಜೀವವನ್ನು ಪಡೆಯುವನು. ಆದರೆ ಮೊದಲನೆಯವರಲ್ಲಿ ಅನೇಕರು ಕಡೆಯವರಾಗುವರು;ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು," ಎಂದರು.

24.05.10 - "ದೇವರಿಗೆ ಎಲ್ಲವೂ ಸಾಧ್ಯ,"

ಸಂತ ಯೊವಾನ್ನನ ಶುಭ ಸಂದೇಶ - 10: 17-27

"ನಿನ್ನ ಆಸ್ತಿ ಪಾಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನ ಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ."

ಅಲ್ಲಿಂದ ಯೇಸು ಸ್ವಾಮಿ ಪ್ರಯಾಣವನ್ನು ಮುಂದುವರಿಸಿದರು.ದಾರಿಯಲ್ಲಿ ಒಬ್ಬನು ಅವರ ಬಳಿಗೆ ಓಡಿ ಬಂದು ಮೊಣಕಾಲೂರಿ,"ಒಳ್ಳೆಯ ಗುರುವೇ,ಅಮರ ಜೀವವು ನನಗೆ ಪ್ರಾಪ್ತಿಯಾಗಬೇಕಾದರೆ ನಾನೇನು ಮಾಡಬೇಕು’ ಎಂದು ಕೇಳಿದನು."ನೀನು ನನ್ನನ್ನು ಒಳ್ಳೆಯವನೆಂದು ಕರೆಯುವುದೇಕೆ?ದೇವರೊಬ್ಬರನ್ನು ಬಿಟ್ಟರೆ ಬೇರೆ ಯಾರೂ ಒಳ್ಳೆಯವರಲ್ಲ.ದೈವಾಜ್ಞೆಗಳು ನಿನಗೆ ತಿಳಿದೇ ಇವೆ:ನರಹತ್ಯೆ ಮಾಡಬೇಡ,ವ್ಯಭಿಚಾರ ಮಾಡಬೇಡ,ಕದಿಯ ಬೇಡ,ಸುಳ್ಳು ಸಾಕ್ಷಿ ಹೇಳಬೇಡ, ಮೋಸ ಮಾಡಬೇಡ, ನಿನ್ನ ತಂದೆ ತಾಯಿಗಳನ್ನು ಗೌರವಿಸು" ಎಂದು ಯೇಸು ಉತ್ತರವಿತ್ತರು. ಅದಕ್ಕೆ ಅವನು "ಗುರು ದೇವಾ, ನಾನು ಬಾಲ್ಯದಿಂದಲೇ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ," ಎಂದು ಹೇಳಿದನು. ಆಗ ಯೇಸು ಅವನನ್ನು ಮಮತೆಯಿಂದ ಈಕ್ಷಿಸಿ," ನೀನು ಮಾಡಬೇಕಾದ ಕಾರ್ಯವೊಂದು ಬಾಕಿಯಿದೆ. ಹೋಗು ನಿನ್ನ ಆಸ್ತಿ ಪಾಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನ ಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು," ಎಂದರು. ಯೇಸುವಿನ ಈ ಮಾತನ್ನು ಕೇಳುತ್ತಲೇ ಅವನ ಮುಖ ಪೆಚ್ಚಾಯಿತು. ಅವನು ಖಿನ್ನ ಮನಸ್ಕನಾಗಿ ಅಲ್ಲಿಂದ  ಹೊರಟು ಹೋದನು.  ಏಕೆಂದರೆ ಅವನಿಗೆ ಅಪಾರ ಆಸ್ತಿಯಿತ್ತು.

ಆಗ ಯೇಸು ಸ್ವಾಮಿ ಸುತ್ತಲೂ ನೋಡಿ, ತಮ್ಮ ಶಿಷ್ಯರನ್ನು ಉದ್ದೇಶಿಸಿ,"ಐಶ್ವರ್ಯವುಳ್ಳವರಿಗೆ ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದು ಎಷ್ಟೊಂದು ಕಷ್ಟ" ಎಂದರು. ಅವರ ಮಾತನ್ನು ಕೇಳಿದ ಶಿಷ್ಯರು ಬೆರಗಾದರು. ಯೇಸು ಪುನ: ಅವರಿಗೆ," ಮಕ್ಕಳೇ, ದೇವರ ಸಾಮ್ರಾಜ್ಯವನ್ನು ಸೇರುವುದು ಎಷ್ಟು ಕಷ್ಟ! ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಸೇರುವುದಕ್ಕಿಂತಲೂ ಒಂಟೆಯ ಸೂಜಿಗಣ್ಣಲ್ಲಿ ನುಸುಳುವುದು ಸುಲಭ," ಎಂದರು. ಇದನ್ನು ಕೇಳಿದ ಮೇಲಂತೂ ಶಿಷ್ಯರಿಗೆ ಅಪರಿಮಿತ ಆಶ್ಚರ್ಯವಾಯಿತು." ಹಾಗಾದರೆ ಯಾರು ತಾನೆ ಜೀವೋದ್ಧಾರ ಹೊಂದಲು ಸಾಧ್ಯ?" ಎಂದು ತಮ್ಮ ತಮ್ಮೊಳಗೇ ಮಾತನಾಡಿಕೊಂಡರು. ಯೇಸು ಅವರನ್ನು ನಿಟ್ಟಿಸಿ ನೋಡಿ,"ಮನುಷ್ಯರಿಗೆ ಇದು ಅಸಾಧ್ಯ, ದೇವರಿಗಲ್ಲ. ದೇವರಿಗೆ ಎಲ್ಲವೂ ಸಾಧ್ಯ," ಎಂದರು.

23.05.10 - "ನಿಮಗೆ ಶಾಂತಿ"

ಸಂತ ಯೊವಾನ್ನನ ಶುಭ ಸಂದೇಶ - 21:19-23

"ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಕ್ಷಮಿಸದೆ ಉಳಿಸಲಾಗುವುದು'

ಅದೇ ಭಾನುವಾರ ಸಂಜೆ ಶಿಷ್ಯರು ಒಂದು ಮನೆಯಲ್ಲಿ ಕೂಡಿದ್ದರು. ಯೆಹೂದ್ಯರಿಗೆ ಅಂಜಿ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು.ಆಗ ಯೇಸು ಬಂದು ಅವರ ನಡುವೆ ನಿಂತರು. "ನಿಮಗೆ ಶಾಂತಿ" ಎಂದು ಹೇಳಿ ತಮ್ಮ ಕಾಲುಗಳನ್ನು ಮತ್ತು ಪಕ್ಕೆಗಳನ್ನು ತೋರಿಸಿದರು.ಪ್ರಭುವನ್ನು ಕಂಡು ಶಿಷ್ಯರಿಗೆ ಮಹದಾನಂದವಾಯಿತು. ಯೇಸು ಪುನ:" ನಿಮಗೆ ಶಾಂತಿ, ಪಿತನು
ನನ್ನನ್ನು ಕಳುಹಿಸಿದಂತೆಯೇ, ನಾನೂ ನಿಮ್ಮನ್ನು ಕಳುಹಿಸಿತ್ತೇನೆ," ಎಂದರು. ಅನಂತರ ಅವರ ಮೇಲೆ ಉಸಿರೂದಿ," ಪವಿತ್ರಾತ್ಮರನ್ನು ಸ್ವೀಕರಿಸಿರಿ.ಯಾರ ಪಾಪಗಳನ್ನು ನೀವು ಕ್ಷಮಿಸುತ್ತೀರೋ,ಅವರಿಗೆ ಅದನ್ನು ಕ್ಷಮಿಸಲಾಗುವುದು.ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಕ್ಷಮಿಸದೆ ಉಳಿಸಲಾಗುವುದು," ಎಂದು ನುಡಿದರು.

22.05.10 - ಶಿಷ್ಯನ ಸಾಕ್ಷಿ

ಸಂತ ಯೊವಾನ್ನನ ಶುಭ ಸಂದೇಶ - 21:20-25

"ಯೇಸು ಮಾಡಿದ ಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನೆಲ್ಲಾ ಒಂದೊಂದಾಗಿ ಬರೆಯಲು ಹೋದರೆ, ಬರೆಯಬೇಕಾದ ಗ್ರಂಥಗಳನ್ನು ಬಹುಶ: ಲೋಕವೇ ಹಿಡಿಸಲಾರದೆಂದು ನೆನೆಸುತ್ತೇನೆ."

ಪೇತ್ರನು ಹಿಂದಿರುಗಿ ನೋಡಿದಾಗ, ಯೇಸುವಿನ ಆಪ್ತನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು( ಭೋಜನ ಸಮಯದಲ್ಲಿ ಪಕ್ಕದಲ್ಲೇ ಒರಗಿ," ಪ್ರಭುವೇ, ನಿಮ್ಮನ್ನು ಹಿಡಿದುಕೊಡುವಂಥ ಸ್ವಾಮಿ ದ್ರೋಹಿ ಯಾರು?" ಎಂದು ಕೇಳಿದವನು ಅವನು) ಇವನ್ನನು ಕಂಡು ಪೇತ್ರನು," ಪ್ರಭೂ ಇವನ ವಿಷಯವೇನು?" ಎಂದು ಯೇಸುವನ್ನು ಕೇಳಿದನು. ಅದಕ್ಕೆ ಯೇಸು," ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂದು ನನ್ನ ಬಯಕೆ: ಆದರೆ ಅದರಿಂದ ನಿನಗೇನಾಗಬೇಕು? ನೀನಂತೂ ನನ್ನನ್ನು ಹಿಂಬಾಲಿಸಿ ಬಾ," ಎಂದರು. ಇದರಿಂದಾಗಿ ಶಿಷ್ಯನಿಗೆ ಸಾವಿಲ್ಲವೆಂಬ ವದಂತಿ ಸೋದರರಲ್ಲಿ ಹಬ್ಬಿತು.ಯೇಸು,’ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದ ನನ್ನ ಬಯಕೆಯಾದರೆ ಅದರಿಂದ ನಿನಗೇನಾಗಬೇಕು? ಎಂದು ಹೇಳಿದರೆ ಹೊರತು ಅವನಿಗೆ ಸಾವಿಲ್ಲವೆಂದು ಹೇಳಲಿಲ್ಲ.ಇವುಗಳಿಗೆ ಆ ಶಿಷ್ಯನೇ ಸಾಕ್ಷಿ. ಇದನೆಲ್ಲಾ ಬರೆದಿಟ್ಟವನೂ ಅವನೇ. ಅವನ ಸಾಕ್ಷಿಸತ್ಯವಾದುದೆಂದು ನಾವು ಬಲ್ಲೆವು.

ಯೇಸು ಮಾಡಿದ ಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನೆಲ್ಲಾ ಒಂದೊಂದಾಗಿ ಬರೆಯಲು ಹೋದರೆ, ಬರೆಯಬೇಕಾದ ಗ್ರಂಥಗಳನ್ನು ಬಹುಶ: ಲೋಕವೇ ಹಿಡಿಸಲಾರದೆಂದು ನೆನೆಸುತ್ತೇನೆ.

21.05.10 - ನನ್ನ ಕುರಿಗಳನ್ನು ಮೇಯಿಸು

ಸಂತ ಯೊವಾನ್ನನ ಶುಭ ಸಂದೇಶ - 21:15-19

"ವೃದ್ಧಾಪ್ಯದಲ್ಲಾದರೋ ನೀನು ಕೈ ಚಾಚುವೆ.ಬೇರೊಬ್ಬನು ನಿನ್ನ ನಡುಕಟ್ಟಿ ನಿನಗಿಷ್ಟವಿಲ್ಲದ ಕಡೆ ನಿನ್ನನ್ನು ನಡೆಸಿಕೊಂಡು ಹೋಗುವನು"

ಊಟವಾದ ಮೇಲೆ ಯೇಸು ಸಿಮೋನ ಪೇತ್ರನನ್ನು ನೋಡಿ,"ಯೊವಾನ್ನನ ಮಗನಾದ ಸಿಮೋನನೇ, ಇವರಿಗಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುತ್ತೀಯಾ"? ಎಂದು ಕೇಳಿದರು. ಅದಕ್ಕೆ ಪೇತ್ರನು, ಹೌದು ಪ್ರಭೂ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ," ಎಂದನು. ಯೇಸು ಅವನಿಗೆ, "ನನ್ನ ಕುರಿಮರಿಗಳನ್ನು ಮೇಯಿಸು," ಎಂದರು. ಯೇಸು
ಎರಡನೆಯ ಬಾರಿ, "ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ? ಎಂದು ಕೇಳಲು, "ಹೌದು ಪ್ರಭುವೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ," ಎಂದು ಮರು ನುಡಿದನು. ಯೇಸು ಅವನಿಗೆ, " ನನ್ನ ಕುರಿಗಳನ್ನು ಕಾಯಿ," ಎಂದರು. ಮೂರನೇ ಬಾರಿಯೂ ಯೇಸು, "ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ? ಎಂದು ಕೇಳಿದರು. ’ನೀನು ನನ್ನನ್ನು ಪ್ರೀತಿಸುತ್ತೀಯಾ?’ ಎಂದು ಯೇಸು ಮೂರನೇ ಬಾರಿ ಕೇಳಿದ್ದನು ಕಂಡು ಪೇತ್ರ ನೊಂದುಕೊಂಡನು." ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ  ನಿಮಗೆ ತಿಳಿದಿದೆ," ಎಂದು ಹೇಳಿದನು. ಅದಕ್ಕೆ ಯೇಸು,"ನನ್ನ ಕುರಿಗಳನ್ನು ಮೇಯಿಸು"; ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ, ಕೇಳು: ತಾರುಣ್ಯದಲ್ಲಿ ನೀನೇ ನಡುಕಟ್ಟಿಕೊಂಡು ಇಷ್ಟಬಂದ ಕಡೆಗೆ ನಡೆದೆ. ವೃದ್ಧಾಪ್ಯದಲ್ಲಾದರೋ ನೀನು ಕೈ ಚಾಚುವೆ.ಬೇರೊಬ್ಬನು ನಿನ್ನ ನಡುಕಟ್ಟಿ ನಿನಗಿಷ್ಟವಿಲ್ಲದ ಕಡೆ ನಿನ್ನನ್ನು ನಡೆಸಿಕೊಂಡು ಹೋಗುವನು." ಎಂದು ನುಡಿದರು.

ಪೇತ್ರನು ಎಂಥಾ ಸಾವಿನಿಂದ ದೇವರ ಮಹಿಮೆಯನ್ನು ಬೆಳಗಿಸಲಿದ್ದಾನೆಂದು ಸೂಚಿಸಿ ಹಾಗೆ ಹೇಳಿದರು. ಇದಾದ ಮೇಲೆ ಯೇಸು ಪೇತ್ರನಿಗೆ, "ನೀನು ನನ್ನನ್ನು ಹಿಂಬಾಲಿಸಿ ಬಾ," ಎಂದರು.

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...