11-10-2010 - ಯೋನನಿಗಿಂತಲೂ ಮೇಲಾದವನು



ಸಂತ ಲೂಕನ ಶುಭ ಸಂದೇಶ - 11: 29 – 32

"ಈ ಪೀಳಿಗೆ ಕೆಟ್ಟ ಪಿಳಿಗೆ.ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ"

ಜನರ ಗುಂಪು ಹೆಚ್ಚುತ್ತಿದ್ದಾಗ, ಯೇಸು ಸ್ವಾಮಿ ಹೀಗೆಂದು ಮುಂದುವರಿಸಿದರು:“ಈ ಪೀಳಿಗೆ ಕೆಟ್ಟ ಪಿಳಿಗೆ.ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು. ಹೇಗೆಂದರೆ, ನಿನೆವೆ ನಗರದ ಜನರಿಗೆ ಪ್ರವಾದಿ ಯೋನನು ಸಂಕೇತವಾದಂತೆ ನರಪುತ್ರನು ಈ ಸಂತತಿಗೆ ಸಂಕೇತವಾಗಿರುವನು.

“ದೈವ ತೀರ್ಪಿನ ದಿನ ದಕ್ಷಿಣದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತುಕೊಂಡು, ಇವರನ್ನು ಅಪರಾಧಿಗಳೆಂದು ತೋರಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೇಶದ ಕಟ್ಟಕಡೆಯಿಂದ ಬಂದಳು. ಆದರೆ, ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ. ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿ ಎಂದು ತೋರಿಸಿವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ ಇಲ್ಲಿದ್ದಾನೆ."

06-10-2010 - ಸರಳ ಪ್ರಾರ್ಥನೆ



ಸಂತ ಲೂಕನ ಶುಭ ಸಂದೇಶ - 11: 1-4

ನಮಗೆ ತಪ್ಪು ಮಾಡಿದ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ, ನಮ್ಮ ಪಾಪಗಳನ್ನು ಕ್ಷಮಿಸಿರಿ

ಒಮ್ಮೆ ಯೇಸುಸ್ವಾಮಿ ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡುತ್ತಾ ಇದ್ದರು. ಅವರ ಪ್ರಾರ್ಥನೆ ಮುಗಿದ ಮೇಲೆ ಶಿಷ್ಯರಲ್ಲಿ ಒಬ್ಬನು, “ಪ್ರಭುವೇ, ಯೊವಾನ್ನನ್ನು ತನ್ನ ಶಿಷ್ಯರಿಗೆ ಪ್ರಾರ್ಥನೆ ಮಾಡುವುದನ್ನು ಕಲಿಸಿದ ಹಾಗೆ ನಮಗೂ ಕಲಿಸಿಕೊಡಿ, “ಎಂದನು.
ಅದಕ್ಕೆ ಯೇಸು ಇಂತೆಂದರು,“ನೀವು ಹೀಗೆ ಪ್ರಾರ್ಥನೆಮಾಡಬೇಕು:
"ತಂದೆಯೇ, ನಿಮ್ಮ ಪವಿತ್ರನಾಮ ಪೂಜಿತವಾಗಲಿ; ನಿಮ್ಮ ಸಾಮ್ರಾಜ್ಯ ಬರಲಿ.
ನಮಗೆ ಅಗತ್ಯವಾದ ಆಹಾರವನ್ನು ಅನುದಿನವೂ ಕೊಡಿ.
ನಮಗೆ ತಪ್ಪು ಮಾಡಿದ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ,
ನಮ್ಮ ಪಾಪಗಳನ್ನು ಕ್ಷಮಿಸಿರಿ.
ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ.”

05-10-2010 - ಸೇವಾಸಕ್ತರು ಹಾಗೂ ಧ್ಯಾನಾಸಕ್ತರು

ಸಂತ ಲೂಕನ ಶುಭ ಸಂದೇಶ - 10: 38-42

ಸೇವಾಸಕ್ತ ಮಾರ್ತಳು – ಧ್ಯಾನಾಸಕ್ತ ಮರಿಯಳು

ಯೇಸು ಸ್ವಾಮಿ ತಮ್ಮ ಶಿಷ್ಯಯರೊಡನೆ ಪ್ರಯಾಣ ಮುಂದುವರಿಸಿ ಒಂದು ಹಳ್ಳಿಗೆ ಬಂದರು. ಅಲ್ಲಿ ಮಾರ್ತಳೆಂಬ ಮಹಿಳೆ ಅವರನ್ನು ತಮ್ಮ ಮನೆಗೆ ಆಮಂತ್ರಿಸಿದಳು. ಆಕೆಗೆ ಮರಿಯಳೆಂಬ ಸೋದರಿ ಇದ್ದಳು. ಈಕೆ ಪ್ರಭುವಿನ ಪಾದತಳದಲ್ಲಿ ಕುಳಿತುಕೊಂಡು ಅವರ ಬೋಧನೆಯನ್ನು ಆಲಿಸುತ್ತಿದ್ದಳು. ಮಾರ್ತಳಾದರೋ, ಅತಿಥಿಸತ್ಕಾರದ ಗಡಿಬಿಡಿಯಲ್ಲಿ ಇದ್ದಳು. ಅವಳು ಬಂದು, “ಪ್ರಭೂ, ನನ್ನ ಸೋದರಿ ಈ ಕೆಲಸವನ್ನೆಲ್ಲಾ ನನ್ನೊಬ್ಬಳಿಗೇ ಬಿಟ್ಟಿದ್ದಾಳೆ. ನೀವಿದನ್ನು ಗಮನಿಸಬಾರದೇ? ನನಗೆ ಸಹಾಯ ಮಾಡುವಂತೆ ಅವಳಿಗೆ ಹೇಳಿ,” ಎಂದಳು. ಯೇಸು ಆಕೆಗೆ ಪ್ರತ್ಯತ್ತರವಾಗಿ, “ಮಾರ್ತಾ, ಮಾರ್ತಾ, ನೀನು ಅನಾವಶ್ಯ ಚಿಂತೆ ಪೇಚಾಟಗಳಿಗೆ  ಒಳಗಾಗಿರುವೆ. ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು,” ಎಂದರು.

04-10-2010 - ಸದಯ ಸಮಾರಿತನ ಸಾಮತಿ


ಸಂತ ಲೂಕನು ಬರೆದ ಶುಭ ಸಂದೇಶ – 10: 25-37

 “ದಯೆ ತೋರಿದವನೇ ನೆರೆಯವನು, ಹೋಗು, ನೀನೂ ಹಾಗೆಯೇ ಮಾಡು” 

ಒಬ್ಬ ಶಾಸ್ತ್ರಜ್ಞನು ಎದ್ದು ಯೇಸು ಸ್ವಾಮಿಯನ್ನು ಪರೀಕ್ಷಿಸುವ ಉದ್ದೇಶದಿಂದ “ಬೋಧಕರೇ, ಅಮರಜೀವ ನನಗೆ ಪ್ರಾಪ್ತಿ ಆಗಬೇಕಾದರೆ ನಾನು ಮಾಡಬೇಕಾದುದು ಏನು?” ಎಂದು ಕೇಳಿದನು. ಅದಕ್ಕೆ ಯೇಸು, “ಧರ್ಮಶಾಸ್ತ್ರದಲ್ಲಿ ಏನು ಬರೆದಿದೆ? ಹೇಗೆ ಪಠಿಸುತ್ತೀಯೆ?” ಎಂದು ಮರುಪ್ರಶ್ನೆ ಹಾಕಿದರು. ಅವನು, “ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ  ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು  ಮತ್ತು ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು’ ಎಂದಿದೆ,” ಎಂದು ಉತ್ತರಕೊಟ್ಟನು. ಯೇಸು, “ಸರಿಯಾಗಿ ಉತ್ತರಕೊಟ್ಟೆ. ಅದರಂತೆ ಮಾಡು. ನಿನಗೆ ಅಮರಜೀವ ಲಭಿಸುವುದು,” ಎಂದರು. ಆದರೆ ಆ ಶಾಸ್ತ್ರಜ್ಞನು ತನ್ನನ್ನು ತಾನೇ ಸಮರ್ಥಿಸಿಕೊಳ್ಳಲು, “ನನ್ನ ನೆರೆಯವನು ಯಾರು? ಎಂದು ಯೇಸುವನ್ನು ಮತ್ತೆ ಪ್ರಶ್ನಿಸಿದನು. ಆಗ ಯೇಸು ಅವನಿಗೆ ಹೀಗೆಂದು ವಿವರಿಸಿದರು.

“ಒಬ್ಬನು ಜೆರುಸಲೇಮಿನಿಂದ ಇಳಿದು ಜೆರಿಕೋವಿಗೆ ಪ್ರಯಾಣ ಮಾಡುತ್ತಿದ್ದಾಗ, ದರೋಡೆಗಾರರ ಕೈಗೆ ಸಿಕ್ಕಿಬಿದ್ದ. ದರೋಡೆಗಾರರು ಅವನನ್ನು ಸುಲಿಗೆ ಮಾಡಿ, ಹೊಡೆದು ಬಡಿದು, ಅರಜೀವ ಮಾಡಿ ಅಲ್ಲೇ ಬಿಟ್ಟುಹೋದರು.ಅದೇ ಮಾರ್ಗವಾಗಿ ಒಬ್ಬ ಯಾಜಕನು ಹಾದು ಹೋಗಬೇಕಾಗಿ ಬಂದಿತು. ಈತನು, ಅವನನ್ನು ಕಂಡದ್ದೇ  ಆಚೆ ಬಳಸಿಕೊಂದಡು ಹೋದ. ಹಾಗೆಯೇ ಲೇವಿಯೊಬ್ಬನು ಆ ಸ್ಥಳಕ್ಕೆ ಬಂದು ಅವನನ್ನು ನೋಡಿ, ಹಾಗೆಯೇ ಬಳಸಿಕೊಂಡು ಹೋದ. ಆದರೆ ಆ ಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದ ಒಬ್ಬ ಸಮಾರಿಯದವನು ಅಲ್ಲಿಗೆ ಬಂದಾಗ, ಅವನನ್ನು ಕಂಡು ಕನಿಕರಪಟ್ಟ. ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹಚ್ಚಿ ಅವುಗಳಿಗೆ ಬಟ್ಟೆ ಕಟ್ಟಿದ. ಬಳಿಕ ಅವನನ್ನು ತನ್ನ ಸ್ವಂತ ವಾಹಕಪಶುವಿನ ಮೇಲೆ ಹತ್ತಿಸಿಕೂಂಡು ಒಂದು ಛತ್ರಕ್ಕೆ ಕರೆದುಕೂಂಡು ಹೋಗಿ, ಆರೈಕೆ ಮಾಡಿದ. ಮಾರನೆಯ ದಿನ ಎರಡು ದಿನಾರಿ ನಾಣ್ಯಗಳನ್ನು ಛತ್ರದವನಿಗೆ ಕೊಟ್ಟು, ’ಇವನನ್ನು ಚೆನ್ನಾಗಿ ನೋಡಿಕೊ, ಇದಕ್ಕಿಂತ ಹೆಚ್ಚು ವೆಚ್ಚ ಆದರೆ ನಾನು ಹಿಂದಿರುಗಿ ಬರುವಾಗ ಸಲ್ಲಿಸುತ್ತೇನೆ ಎಂದ’. 
“ದರೋಡೆಗಾರರ ಕೈಗೆ ಸಿಕ್ಕಿದವನಿಗೆ ಈ ಮೂವರಲ್ಲಿ ಯಾರು ನೆರೆಯವನೆಂದು ನಿನಗೆ ತೋರುತ್ತದೆ?” ಎಂದು ಯೇಸು ಆ ಶಾಸ್ತ್ರಜ್ಞನನ್ನು ಕೇಳಿದರು. ಅದಕ್ಕೆ ಅವನು, “ದಯೆ ತೋರಿದವನೇ ನೆರೆಯವನು,” ಎಂದನು. ಆಗ ಯೇಸು, “ಹೋಗು, ನೀನೂ ಹಾಗೆಯೇ ಮಾಡು,” ಎಂದು ಹೇಳಿದರು.


02-10-2010 - ಎಪ್ಪತ್ತೆರಡು ಮಂದಿಯ ನಿಯೋಗ

ಸಂತ ಲೂಕನ ಶುಭ ಸಂದೇಶ – 10: 17-24

"ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ"

ಕಳುಹಿಸಲಾಗಿದ್ದ ಎಪ್ಪತ್ತೆರಡು ಮಂದಿ ಸಂತೋಷಭರಿತರಾಗಿ ಹಿಂದಿರುಗಿ ಬಂದು, “ಸ್ವಾಮಿ, ನಿಮ್ಮ ಹೆಸರಿನಲ್ಲಿ ಆಜ್ಞೆಮಾಡಿದಾಗ ದೆವ್ವಗಳು ಕೂಡ ನಮಗೆ ಅಧೀನವಾಗುತ್ತವೆ,” ಎಂದು ವರದಿಮಾಡಿದರು. ಅದಕ್ಕೆ ಯೇಸು, “ಸೈತಾನನು ಆಕಾಶದಿಂದ ಸಿಡಿಲಿನಂತೆ ಬೀಳುವುದನ್ನು ಕಂಡೆನು. ಇಗೋ, ಸರ್ಪಗಳನ್ನು ಹಾಗೂ ಚೇಳುಗಳನ್ನು ತುಳಿಯುವುದಕ್ಕೂ ಶತ್ರುವಿನ ಸಮಸ್ತ ಶಕ್ತಿಯನ್ನು ಜಯಿಸುವುದಕ್ಕೂ ನಿಮಗೆ ಹಾನಿಮಾಡದು. ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿರಿ,” ಎಂದು ಹೇಳಿದರು. 

ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ. ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಚಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು. ಅನಂತರ ಯೇಸು ಶಿಷ್ಯರ ಕಡೆ ತಿರುಗಿ, ಅವರಿಗೆ ಪ್ರತ್ಯೇಕವಾಗಿ, “ನೀವು ಕಾಣುವುದನ್ನು ಕಾಣುವ ಕಣ್ಣುಗಳು ಭಾಗ್ಯವುಳ್ಳವು. ಏಕೆಂದರೆ, ಎಷ್ಟೋ ಪ್ರವಾದಿಗಳು ಹಾಗೂ ಅರಸರು ನೀವು ನೋಡುವುದನ್ನು ನೋಡುವುದಕ್ಕೂ, ನೀವು ಕೇಳುವುದನ್ನು ಕೇಳುವುದಕ್ಕೂ ಆಶಿಸಿದರು. ಆದರೂ ಅದನ್ನು ಅವರು ನೋಡಲೂ ಇಲ್ಲ, ಕಾಣಲೂ ಇಲ್ಲ ಎಂದು ನಿಮಗೆ ಹೇಳುತ್ತೇನೆ,” ಎಂದರು. 

01.10.10 - ತೀರ್ಪಿನ ದಿನ

ಲೂಕನ ಶುಭ ಸಂದೇಶ - 10-13-16

"ನನ್ನನ್ನು ಅಲಕ್ಷ್ಯ ಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೆ ಅಲಕ್ಷ್ಯ ಮಾಡುತ್ತಾನೆ”

ಯೇಸು ಹೀಗೆಂದರು: “ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣಿತಟ್ಟನ್ನು  ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗುತ್ತಿದ್ದರು. ಆದುದರಿಂದ ತೀರ್ಪಿನ ದಿನ  ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಸಹನೀಯವಾಗಿರುವುದು. ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಇಂದು ನೆನಸುತ್ತೀಯೋ? ಇಲ್ಲ,  ಪಾತಾಳಕ್ಕೆ ಇಳಿಯುವೆ”

ಅನಂತರ ತಮ್ಮ ಶಿಷ್ಯರನ್ನು ಉದ್ದೆಶಿಸಿ, “ನಿಮ್ಮನ್ನು ಆಲಿಸಿವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನು ಅಲಕ್ಷ್ಯ ಮಾಡುವವನು ನನ್ನನ್ನೇ ಅಲಕ್ಷ್ಯ ಮಾಡುತ್ತಾನೆ. ನನ್ನನ್ನು ಅಲಕ್ಷ್ಯ ಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೆ ಅಲಕ್ಷ್ಯ ಮಾಡುತ್ತಾನೆ” ಎಂದರು. 

29.09.10 - ನತಾನಿಯೇಲನ ವಿಶ್ವಾಸ

ಲೂಕನ ಶುಭ ಸಂದೇಶ - 1:47-51

"ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ"

ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, "ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ," ಎಂದು ನುಡಿದರು. ನತಾನಿಯೇಲನು,"ನನ್ನ ಪರಿಚಯ ನಿಮಗೆ ಹೇಗಾಯಿತು?" ಎಂದು ಕೇಳಲು ಯೇಸು, "ಫಿಲಿಪ್ಪನು ನಿನ್ನನ್ನು ಕರೆಯುವ ಮೊದಲೇ ನೀನು ಅಂಜುರ ಮರದಡಿ ಇದ್ದಾಗ ನಾನು ನಿನ್ನನ್ನು ಕಂಡೆ," ಎಂದು ಉತ್ತರಕೊಟ್ಟರು. ಅದಕ್ಕೆ ನತಾನಿಯೇಲನು, "ಗುರುದೇವಾ, ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ," ಎಂದನು. ಆಗ ಯೇಸು, "ಅಂಜೂರದ ಮರದಡಿ ನಿನ್ನನ್ನು ಕಂಡೆ ಎಂದು ನಾನು ಹೇಳಿದ ಮಾತ್ರಕ್ಕೆ ಅಷ್ಟೊಂದು ವಿಶ್ವಾಸವೇ? ಇದಕ್ಕೂ ಮಿಗಿಲಾದವುಗಳನ್ನು ನೀನು ಕಾಣುವೇ," ಎಂದು ನುಡಿದರು. ತಮ್ಮ ಮಾತನ್ನು ಮುಂದುವರಿಸುತ್ತಾ, "ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ," ಎಂದು ಹೇಳಿದರು.

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...