11.05.2018

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು: 18 :9-18
 ಒ೦ದು ರಾತ್ರಿ ಪೌಲನಿಗೆ ಪ್ರಭು ದರ್ಶನ ಇತ್ತು, "ಭಯಪಡಬೇಡ, ಬೋಧನೆ ಮಾಡುವುದನ್ನು ಮು೦ದುವರಿಸು, ನಾನು ನಿನ್ನೊಡನೆ ಇದ್ದೇನೆ. ಯಾರೂ ನಿನ್ನ ಮೇಲೆ ಬಿದ್ದು ಹಾನಿ ಮಾಡುವುದಿಲ್ಲ. ಪಟ್ಟಣದ ಅನೇಕ ಜನರು ನನ್ನ ಪರವಾಗಿದ್ದಾರೆ," ಎ೦ದರು. ಅ೦ತೆಯೇ ಪೌಲನು ಒ೦ದೂವರೆ ವರ್ಷಕಾಲ ಅಲ್ಲಿದ್ದು ದೇವರ ವಾಕ್ಯವನ್ನು ಜನರಿಗೆ ಬೋಧಿಸಿದನು. ಗಲ್ಲಿಯೋ ಎ೦ಬುವನು ಅಖಾಯದಲ್ಲಿ ರಾಜ್ಯಪಾಲನಾಗಿದ್ದಾಗ, ಯೆಹೂದ್ಯರು ಪೌಲನ ವಿರುದ್ದ ಒಟ್ಟುಗೂಡಿ ಅವನನ್ನು ಬ೦ಧಿಸಿ ನ್ಯಾಯಾಸ್ಥಾನಕ್ಕೆ ಕೊ೦ಡೊಯ್ದರು. "ಧರ್ಮಶಾಸ್ತ್ರಕ್ಕೆ ವ್ಯತಿರಿಕ್ತವಾದ ರೀತಿಯಲ್ಲಿ ದೇವರನ್ನು ಆರಾಧಿಸುವ೦ತೆ ಈ ಮನುಷ್ಯ ಜನರನ್ನು ಪ್ರೇರೇಪಿಸುತ್ತಾ ಇದ್ದಾನೆ," ಎ೦ದು ಅಲ್ಲಿ ದೂರಿತ್ತರು. ಪೌಲನು ಮಾತನಾಡಬೇಕೆ೦ದಿರುವಾಗ, ಗಲ್ಲಿಯೋ ಯೆಹೂದ್ಯರನ್ನು ಸ೦ಬೋಧಿಸಿ, "ಯೆಹೂದ್ಯರೇ, ಅನ್ಯಾಯವಾಗಲಿ, ಅಕ್ರಮವಾಗಲಿ ನಡೆದಿದ್ದ ಪಕ್ಷದಲ್ಲಿ, ನಿಮ್ಮ ಅಪಾದನೆಗಳನ್ನು ತಾಳ್ಮೆಯಿ೦ದ ಕೇಳಬೇಕಾದುದು ಸರಿಯಷ್ಟೆ. ಆದರೆ ಇದು ನಾಮನೇಮಗಳಿಗೆ ಹಾಗು ನಿಮ್ಮ ಧರ್ಮಶಾಸ್ತ್ರಕ್ಕೆ ಸ೦ಬ೦ಧಪಟ್ಟ ಪ್ರಶ್ನೆ. ಅದನ್ನು ನಿಮ್ಮನಿಮ್ಮಲ್ಲೇ ಇತ್ಯರ್ಥಮಾಡಿಕೊಳ್ಳಿ. ಇ೦ಥ ವಿಷಯಗಳನ್ನು ವಿಚಾರಣೆ ಮಾಡಲು ನನಗೆ ಮನಸ್ಸಿಲ್ಲ" ಎ೦ದು ಹೇಳಿ ಅವರನ್ನು ನ್ಯಾಯಸ್ಥಾನದಿ೦ದ ಹೊರಗಟ್ಟಿದನು. ಆಗ ಅವರೆಲ್ಲರೂ ಪ್ರಾರ್ಥನಾಮ೦ದಿರದ ಅಧ್ಯಕ್ಷ ಸೋಸ್ಥೆನನನ್ನು ಬ೦ಧಿಸಿ, ನ್ಯಾಯಸ್ಥಾನದ ಮು೦ದೆಯೇ ಹೊಡೆದರು. ಗಲ್ಲಿಯೋ ಇದೊ೦ದನ್ನು ಲಕ್ಷಿಸಲಿಲ್ಲ. ಇದಾದಮೇಲೆ ಪೌಲನು ಕೊರಿ೦ಥದಲ್ಲಿ ಅನೇಕ ದಿನ ಇದ್ದನು. ಅನ೦ತರ ಭಕ್ತವಿಶ್ವಾಸಿಗಳನ್ನು ಬೀಳ್ಕೊಟ್ಟು ಅಕ್ವಿಲ ಮತ್ತು ಪ್ರಿಸ್ಸಿಲ್ಲರೊಡನೆ ಸಿರಿಯಕ್ಕೆ ನೌಕಾಯಾನ ಹೊರಟನು. ತಾನು ಮಾದಿದ್ದ ಹರಕೆಯ ಪ್ರಕಾರ ಕೆ೦ಖ್ರೆಯೆ೦ಬ ಸ್ಥಳದಲ್ಲಿ ಮು೦ಡನಮಾಡಿಸಿಕೊ೦ಡನು.

ಶುಭಸ೦ದೇಶ: ಯೊವಾನ್ನ: 16:20-22
ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಅತ್ತು ಗೋಳಾಡುವಿರಿ; ಲೋಕವಾದರೋ ನಕ್ಕು ನಲಿದಾಡುವುದು. ನೀವು ದುಃಖಪಡುವಿರಿ. ಆದರೆ ನಿಮ್ಮ ದುಃಖ ಆನ೦ದವಾಗಿ ಮಾರ್ಪಡುವುದು. ಗರ್ಭಿಣಿಯಾದ ಸ್ತ್ರೀಯು ಪ್ರಸವಿಸುವ ಗಳಿಗೆ ಬ೦ದಾಗ ವೇದನೆ ಪಡುತ್ತಾಳೆ; ಮಗುವನ್ನು ಹೆರುತ್ತಲೇ ಜಗದಲ್ಲಿ ಮಾನವನೊಬ್ಬನು ಜನಿಸಿದನೆ೦ಬ ಉಲ್ಲಾಸದಿ೦ದ ತಾನು ಪಟ್ಟ ವೇದನೆಯನ್ನು ಮರೆತು ಬೆಡಿತ್ತಾಳೆ; ನಿಮಗೆ ಈಗ ದುಃಖವಿದೆ; ನಾನು ನಿಮ್ಮನ್ನು ಮರಳಿ ಕ೦ಡಾಗ ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿ೦ದ ಕಸಿದುಕೊಳ್ಳುವುದಿಲ್ಲ ಆ ದಿನದ೦ದು ನನ್ನಿ೦ದ ನೀವೇನನ್ನೂ ಕೇಳುವ೦ತಿಲ್ಲ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಪಿತನಲ್ಲಿ ಏನನ್ನು ಬೇಡಿಕೊ೦ಡರೂ ನಿಮಗೆ ಅವರು ನನ್ನ ಹೆಸರಿನಲ್ಲಿ ಕೊಟ್ಟೇ ತೀರುವರು.

08.05.2018

ಮೊದಲನೇ: ವಾಚನ ಪ್ರೇಷಿತರ ಕಾರ್ಯಕಲಾಪಗಳು 16:22-34 
ಜನರ ಗಂಪು ಅವರೊಡನೆ ಸೇರಿ ದೊಂಬಿಮಾಡಿತು. ನ್ಯಾಯಾಧಿಪತಿಗಳು ಪೌಲ ಮತ್ತು ಸೀಲರ ವಸ್ತ್ರಗಳನ್ನು ಕಿತ್ತುಹಾಕಿಸಿ ಛಡಿ ಏಟುಗಳನ್ನು ಕೊಡುವಂತೆ ಆಜ್ಞೆ ಮಾಡಿದರು. ಅವರನ್ನು ಚೆನ್ನಾಗಿ ಥಳಿಸಿದ ಮೇಲೆ ಸೆರೆಮನೆಯಲ್ಲಿ ಹಾಕಿ ಎಚ್ಚರಿಕೆಯಿಂದ ನೋಡಿಕೊಳ್ಳಬೇಕೆಂದು ಸೆರೆಮನೆಯ ಅಧಿಕಾರಿಗೆ ಅಪ್ಪಣೆ ವಿಧಿಸಲಾಯಿತು. ಅಂತೆಯೇ, ಆ ಅಧಿಕಾರಿ ಅವರನ್ನು ಸೆರೆಮನೆಯ ಒಳಕೋಣೆಗೆ ತಳ್ಳಿ ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಿಗಿಸಿದನು. ಸುಮಾರು ನಡುರಾತ್ರಿಯ ಸಮಯ. ಪೌಲ ಮತ್ತು ಸೀಲ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು. ಇದ್ದಕಿದ್ದಂತೆ ಭೀಕರ ಭೂಕಂಪ ಉಂಟಾಯಿತು. ಸೆರೆಮನೆಯ ಅಸ್ತಿವಾರವೇ ಕದಲಿತು. ಆಕ್ಷಣವೇ ಕದಗಳೆಲ್ಲಾ ತೆರೆದವು. ಕೈದಿಗಳೆಲ್ಲರ ಬಂಧನಗಳು ಕಳಚಿಬಿದ್ದವು. ಎಚ್ಚೆತ್ತ ಅಧಿಕಾರಿ ಸೆರೆಮನೆಯ ಬಾಗಿಲುಗಳೆಲ್ಲಾ ತೆರೆದಿರುವುದನ್ನು ಕಂಡನು. ಕೈದಿಗಳೆಲ್ಲರು ತಪ್ಪಿಸಿಕೊಂಡಿರುವರೆಂದು ಭಾವಿಸಿ ತನ್ನ ಖಡ್ಗವನ್ನು ಹಿರಿದು ಆತ್ಮಹತ್ಯ ಮಾಡಿಕೊಳ್ಳುವುದರಲ್ಲಿದ್ದನು. ಆಗ ಪೌಲ ಗಟ್ಟಿಯಾಗಿ ಕೂಗುತ್ತಾ, "ನೀನೆನು ಹಾನಿಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ," ಎಂದನು. ಸೆರೆಮನೆಯ ಅಧಿಕಾರಿ ದೀಪವನ್ನು ತರಿಸಿ, ಒಳಗೆ ಧಾವಿಸಿ ಬಂದು, ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಪಾದಕ್ಕೆ ಬಿದ್ದನು. ಆನಂತರ ಅವರನ್ನು ಹೊರಗೆ ಕರೆತಂದು, "ಸ್ವಾಮಿಗಳೇ, ಜೀವೋದ್ದಾರ ಪಡೆಯಲು ನಾನು ಮಾಡಬೇಕಾದುದು ಏನು?" ಎಂದು ವಿಚಾರಿಸಿದನು. "ಪ್ರಭು ಯೇಸುವಿನಲ್ಲಿ ವಿಶ್ವಾಸವಿಡು, ನೀನು ನಿನ್ನ ಮನೆಯವರೆಲ್ಲರೂ ಜೀವೂದ್ದಾರವನ್ನು ಹೊಂದುವಿರಿ," ಎಂದು ಅವರು ಉತ್ತರಕೊಟ್ಟರು. ಆನಂತರ ಪ್ರಭುವಿನ ಸಂದೇಶವನ್ನು ಅವನಿಗೂ ಅವನ ಮನಯಲ್ಲಿದ್ದ ಎಲ್ಲಾರಿಗೂ ಭೋಧಿಸಿದರು. ರಾತ್ರಿಯ ವೇಳೆಯಲ್ಲೇ ಸೆರೆಮನೆಯ ಅಧಿಕಾರಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು. ಆನಂತರ ಅವನೂ ಅವನ ಕುಟುಂಬದವರೂ ದೀಕಕ್ಷಾಸ್ನಾನವನ್ನು ಪಡೆದರು. ಬಳಿಕ ಪೌಲ ಮತ್ತು ಸೀಲರನ್ನುತನ್ನ ಮನೆಗೆ ಕರೆದುಕೊಂಡು ಹೋಗಿ ಊಟಬಡಿಸಿದನು. ದೇವರಲ್ಲಿ ವಿಶ್ವಾಸವಿಡುವ ಸದವಕಾಶ ದೊರಕಿದ್ದಕಾಗಿ ಅವನೂ ಅವನ ಮನೆಯವರೆಲ್ಲರೂ ಉಲ್ಲಾಸಗೊಂಡರು. 

ಕೀರ್ತನೆ: 138:1-2, 3,7-8 
ಶ್ಲೋಕ ಇಕ್ಕಟ್ಟಿನಲ್ಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭೂ ಪ್ರಾಣವನು 

ಶುಭಸಂದೇಶ: ಯೊವಾನ್ನ 16:5-11 
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ನಾನು ನಿಮ್ಮ ಸಂಗಡ ಇದ್ದುದ್ದರಿಂದ ಇದನ್ನೆಲ್ಲಾ ಮೊದಲೇ ನಿಮಗೆ ತಿಳಿಸಲಿಲ್ಲ. ಈಗಲಾದರೋ ನನ್ನನ್ನು ಕಳುಹಿಸಿದಾತನಲ್ಲಿಗೆ ನಾನು ತೆರಳುತ್ತೇನೆ. ನಾನು ಹೋಗುವುದು ಎಲ್ಲಿಗೆ ಎಂದು ನೀವು ಯಾರೂ ಕೇಳುತ್ತಿಲ್ಲವಾದರೂ ಇದನ್ನೆಲ್ಲಾ ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ. ವಾಸ್ತವವಾಗಿ ಹೇಳುವುದಾದರೆ, ಪೋಷಕ ನಿಮ್ಮಲ್ಲಿಗೆ ಬರುವುದಿಲ್ಲ. ನಾನು ಹೋದರೆ ಮಾತ್ರ ಅವರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡಬಲ್ಲೆ. ಆ ಪೋಷಕ ಬಂದು ಪಾಪ, ನ್ಯಾಯನೀತಿ ಮತ್ತು ಅಂತಿಮ ತೀರ್ಪು ಇವುಗಳನ್ನು ಕುರಿತು ಲೋಕದ ಜನತೆ ತಾಳಿದ್ದ ತಪ್ಪುಭಾವನೆಗಳನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ನಾನು ಪಿತನ ಬಳಿಗೆ ಹೋಗುತ್ತೇನೆ ಮತ್ತು ನೀವು ನನ್ನನ್ನು ಕಾಣಲಾರಿರಿ. ಅಂತಿಮ ತೀರ್ಪಿನ ವಿಷಯವಾಗಿ  ಅವರ ತಪ್ಪು ಭಾವನೆಗಳನ್ನು ಮನವರಿಕೆಮಾಡಿಕೊಡುವರು. ಏಕೆಂದರೆ, ಇಹದ ಲೋಕಾಧಿಪತಿಗೆ ಈಗಾಗಲೇ ನ್ಯಾಯತೀರ್ಪನ್ನು ಕೊಡಲಾಗಿದೆ.


05.05.2018

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 16:1-10 


  ಪೌಲನು ದೆರ್ಭೆಗೂ ಅಲ್ಲಿಂದ ಲುಸ್ತ್ರಕ್ಕೂ ಪ್ರಯಾಣಮಾಡಿದನು. ತಿಮೊಥೇಯ ಎಂಬ ಕ್ರೈಸ್ತಭಕ್ತನು ಅಲ್ಲಿ ವಾಸಿಸುತ್ತಿದ್ದನು. ಇವನ ತಾಯಿ ಯೆಹೂದ್ಯಳು ಹಾಗೂ ಕ್ಕೈಸ್ತಭಕ್ತಳು. ತಂದೆಯಾದರೋ ಗ್ರೀಕನು ಲುಸ್ತ್ರ ಮತ್ತು ಇಕೋನಿಯದ ಸಹೋದರರೆಲ್ಲರಿಗೆ ತಿಮೊಥೇಯನ ಬಗ್ಗೆ ಸದಭಿಪ್ರಾಯವಿತ್ತು. ಪೌಲನು ತಿಮೊಥೇಯನನ್ನು ತನ್ನೊಡನೆ ಕರೆದುಕೊಂಡು ಹೋಗಲು ಅಪೇಕ್ಷಿಸಿದನು. ಆ ಪ್ರದೇಶಗಳಲಿದ್ದ ಯೆಹೂದ್ಯರಿಗೆ ತಿಮೊಥೇಯನ ತಂದೆ ಗ್ರೀಕನೆಂದು ತಿಳಿದಿದ್ದುದರಿಂದ ಅವನಿಗೆ ಸುನ್ನತಿ ಮಾಡಿಸಿದನು. ಊರಿಂದ ಊರಿಗೆ ಪ್ರಯಾಣ ಮಾಡುತ್ತಾ, ಜೆರುಸಲೇಮಿನಲ್ಲಿದ್ದ ಪ್ರೇಷಿತರೂ ಸಭಾಪ್ರಮುಖರೂ ನಿರ್ಧರಿಸಿದ ನಿಯಮಗಳನ್ನು ಭಕ್ತರಿಗೆ ಬೋದಿಸುತ್ತಾ, ಅವುಗಳನ್ನು ಪಾಲಿಸುವಂತೆ ಹೇಳಿದರು . ಹೀಗೆ ಕ್ರೈಸ್ತ ಸಭೆಗಳು ವಿಶ್ವಾಸದಲ್ಲಿ ದೃಡಗೊಂಡು ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಬೆಳೆಯತೊಡಗಿತು. ಏಷ್ಯದಲ್ಲಿ ಅವರು ಶುಭಸಂದೇಶವನ್ನು ಸಾರಕೂಡದೆಃದು ಪವಿತ್ರಾತ್ಮ ನಿಷೇಧಿಸಿದ್ದರಿಂದ ಅವರು ಫ್ಘಿಜಿಯ ಮತ್ತು ಗಲಾತ್ಯ ಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು. ಮೂಸಿಯದ ಗಡಿಯನ್ನು ತಲುಪಿದಾಗ ಅವರು ಬಿಥೂನಿಯ ಪ್ರಾಂತ್ಯಕ್ಕೆ ಹೋಗಲು ಯತ್ನಿಸಿದರು. ಯೇಸುವಿನ ಆತ್ಮ ಅಲ್ಲಿಗೆ ಹೋಗಲು ಸಹ ಅವರನ್ನು ಬಿಡಲಿಲ್ಲ. ಆದುದರಿಂದ ಅವರು ಮೂಸಿಯವನ್ನು ಹಾದು ನೇರವಾಗಿ ತ್ರೋವಕ್ಕೆ ಹೋದರು. ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು; ಮಕೆದೋನಿಯದ ಒಬ್ಬ ವ್ಯಕ್ತಿ ಅಲ್ಲಿ ನಿಂತು, "ಮಕೆದೋನಿಯಕ್ಕೆ ಬಂದು ನಮಗೆ ಸಹಾಯಮಾಡಿ," ಎಂದು ಅಂಗಲಾಚಿದನು. ಪೌಲನಿಗೆ ಈ ದರ್ಶನವಾದ ತಕ್ಷಣ ಆ ಜನರಿಗೆ ಶುಭಸಂದೇಶವನ್ನು ಸಾರಲು ದೇವರು ನಮ್ಮನ್ನು ಕರೆದಿದ್ದಾರೆಂದು ನಾವು ಅರಿತುಕೊಂಡು ಮಕೆದೋನಿಯಕ್ಕೆ ಹೋಗಲು ಸಿದ್ದರಾದೆವು.


ಕೀರ್ತನೆ: 100:1b-3,5
ಶ್ಲೋಕ: ಭೂನಿವಾಸಿಗಳೇ, ಜಯಘೋಷಮಾಡಿ ಪ್ರಭುವಿಗೆ.

 ಶುಭಸಂದೇಶ ಯೊವಾನ್ನ 15:18-21 

 "ಲೋಕವು ನಿಮ್ಮನ್ನು ದ್ವೇಷಿಸಿದರೆ, ನನ್ನ ಮೇಲೆ ಅದಕ್ಕೆ ದ್ವೇಷವಿತ್ತೆಂಬುದನ್ನು ನೆನಪಿನಲ್ಲಿಡಿ. ನೀವು ಲೋಕದ ಕಡೆಯವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಮಮತೆಯಿಂದ ಕಾಣುತ್ತಿತ್ತು. ನೀವಾದರೋ ಲೋಕದ ಕಡೆಗೆ ಸೇರಿದವರಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿರುವುದರಿಂದ ನೀವು ಲೋಕದಿಂದ ಬೇರ್ಪಟ್ಟಿದ್ದೀರಿ. ಎಂದೇ ಲೋಕಕ್ಕೆ ನಿಮ್ಮ ಮೇಲೆ ದ್ವೇಷವಿದೆ. ಧಣಿಗಿಂತಲೂ ದಾಸನು ದೊಡ್ಡವನಲ್ಲವೆಂದು ನಾನು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿ. ಅವರು ನನ್ನನ್ನು ಹಿಂಸೆಗೆ ಗುರಿಮಾಡಿದಂತೆ ನಿಮ್ಮನ್ನೂ ಹಿಂಸೆಗೆ ಗುರಿಮಾಡುವರು. ನನ್ನ ಭೋಧನೆಯ ಮಾತನ್ನು ಅವರು ಅನುಸರಿಸಿ ನಡೆದರೆ ನಿಮ್ಮ ಬೋಧನೆಯ ಮಾತನ್ನೂ ಅನುಸರಿಸಿ ನಡೆಯುವರು. ನೀವು ನನ್ನವರಾದುದರಿಂದ ಅವರು ನಿಮ್ಮನ್ನು ಹೀಗೆ ಕಾಣುವರು. ಏಕೆಂದರೆ ನನ್ನನ್ನು ಕಳುಹಿಸಿದಾತನನ್ನು ಅವರು ಅರಿಯರು" ಎಂದು ಯೇಸುಸ್ವಾಮಿ ಹೇಳಿದರು.

04.05.2018

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 

 ಆನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿ ಪಡೆದು,ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ನಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಬೇಕೆಂದು ನಿರ್ಧರಿಸಿದರು. ಅಂತೆಯೇ ಸಹೋದರಲ್ಲಿ ಬಹು ಗೌರವಾನ್ವಿತರಾದ ಬಾರ್ನಬ ಎಂದು ಕರೆಯಲಾದ ಯೂದ ಮತ್ತು ಸೀಲ ಎಂಬ ಇಬ್ಬರನ್ನು ಆರಿಸಿದರು. ಈ ಕೆಳಗಿನ ಪತ್ರವನ್ನು ಬರೆದು ಅವರ ಕೈಯಲ್ಲಿ ಕಳುಹಿಸಿದರು. "ಅಂತಿಯೋಕ್ಯ, ಸಿರಿಯ ಮತ್ತು ಸಿಲಿಸಿಯಗಳಲ್ಲಿ ವಾಸಿಸುವ ಯೆಹೂದ್ಯೇತರ ಸಹೋದರರಿಗೆ - ಪ್ರೇಷಿತರೂ ಸಭಾಪ್ರಮುಖರೂ ನಿಮ್ಮ ಸಹೋದರರೂ ಆದ ನಮ್ಮ ಶುಭಾಶಯಗಳು! ನಮ್ಮ ಕಡೆಯ ಕೆಲವು ಜನರು ನಮ್ಮಿಂದ ಯಾವ ಆದೇಶವನ್ನೂ ಪಡೆಯದೆ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮ ಮನಸ್ಸನ್ನು ಕಲಕಿದರೆಂಬ ಸಮಾಚಾರ ನಮ್ಮ ಗಮನಕ್ಕೆ ಬಂದಿದೆ. ಆದುದರಿಂದ ನಾವೆಲ್ಲಾರು ಸಭೆಸೇರಿ ಪ್ರತಿನಿಧಿಗಳನ್ನು ಆರಿಸಿ ನಿಮ್ಮಲ್ಲಿಗೆ ಕಳುಹಿಸಲು ನಿರ್ಧರಿಸಿದೆವು. ನಮ್ಮ ಪ್ರಭುವಾದ ಯೇಸುಕ್ರಿಸ್ತರಿಗಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟಿರುವ ನಮ್ಮೊಲವಿನ ಬಾರ್ನಬ  ಮತ್ತು ಪೌಲರೊಡನೆ ಈ ಪ್ರತಿನಿಧಿಗಳು ಬರುತ್ತಿದ್ದಾರೆ. ಇವರೇ ನಾವು ಕಳುಹಿಸುತ್ತಿರುವ  ಯೂದ ಮತ್ತು ಸೀಲ. ಇವರು ನಾವು ಬರೆದಿರುವುದನ್ನು ನಿಮಗೆ ಖುದ್ದಾಗಿ ತಿಳಿಸುವರು. ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು. ಅದನ್ನು ಸೇವಿಸಬಾರದು; ರಕ್ತವನ್ನಾಗಲಿ, ಕುತ್ತಿಗೆ ಹಿಸುಕಿಕೊಂದ ಪ್ರಾಣಿಗಳನ್ನಾಗಲಿ ತಿನ್ನಬಾರದು; ಅನೈತಿಕತೆಯಿಂದ ದೂರವಿರಬೇಕು. ಈ ಅಗತ್ಯ ನಿಯಮಗಳ  ಹೊರತು ಬೇರೆ ಯಾವ ಹೊರೆಯನ್ನೂ ನಿಮ್ಮ ಮೇಲೆ ಹೇರುವುದು ವಿಹಿತವಲ್ಲವೆಂಬುದು ಪವಿತ್ತಾತ್ಮ ಅವರ ಹಾಗು ನಮ್ಮ ತೀರ್ಮಾನ. ಈ ನಿಯಮಗಳನ್ನು ಅನುಸರಿಸಿದರೆ, ನಿಮಗೆ ಒಳಿತಾಗುವುದು, ನಿಮಗೆ ಶುಭವಾಗಲಿ!" ಅಂತಯೇ ಪ್ರತಿನಿಧಿಗಳು ಅಲ್ಲಿಂದ ಅಪ್ಪಣೆ ಪಡೆದು ಅಂತಿಯೋಕ್ಯಕ್ಕೆ ಹೋದರು. ಅಲ್ಲಿ ಭಕ್ತ ಸಭೆಯನ್ನು ಒಟ್ಟುಗೂಡಿಸಿ ಅವರಿಗೆ ಆ ಪತ್ರವನ್ನು ಕೊಟ್ಟರು. ಪತ್ರದಲ್ಲಿದ್ದ ಪ್ರೋತ್ಸಾಹದಾಯಕ ಸಂದೇಶವನ್ನು ಓದಿದ್ದೇ ಭಕ್ತಾದಿಗಳು ಆನಂದಭರಿತರಾದರು.

 ಕೀರ್ತನೆ:  57:8-9, 10,12
 ಶ್ಲೋಕ; ನಿನ್ನ ಸ್ತುತಿಸುವೆನು ಪ್ರಭೂ ಜನಾಂಗಗಳ ಮುಂದೆ.

 ಶುಭಸಂದೇಶ ಯೊವಾನ್ನ  15:12-17 

 "ನಾನು ಕೊಡುವ ಆಜ್ಞೆ ಏನೆಂದರೆ: ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಗೆಳೆಯರಿಗಾಗಿ ತನ್ನ ಪ್ರಾಣವನ್ನೇ ಧಾರೆಯೆರೆಯುವ ಪ್ರೀತಿಗಿಂತ ಮಿಗಿಲಾದ ಪ್ರೀತಿ ಯಾರಲ್ಲೂ ಇಲ್ಲ. ನಾನು ಅಜ್ಞಾಪಿಸಿದಂತೆ ನಡೆದರೆ  ನೀವು ನನ್ನ ಗೆಳೆಯರು. ನಾನಿನ್ನು ನಿಮ್ಮನ್ನು ದಾಸರಂದು ಕರೆಯುವುದಿಲ್ಲ. ಧಣಿಯ ಕೆಲಸಕಾರ್ಯಗಳು ದಾಸನಿಗೆ ತಿಳಿಯವು. ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ. ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೊಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು. ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕಂದೇ ನಾನು ನಿಮಗೆ ಕೊಡುವ ಆಜ್ಞೆ" ಎಂದರು ಯೇಸುಸ್ವಾಮಿ.

03.05.2018

 ಮೊದಲನೇ ವಾಚನ: 1 ಕೊರಿಂಥಿಯರಿಗೆ 15:1-8 
 (ಪ್ರೇಷಿತರ ಕಾರ್ಯಕಲಾಪಗಳು 15:7-21) 


 ಪ್ರಿಯ ಸಹೋದರರೇ, ನಾನು ನಿಮಗೆ ಭೋಧಿಸಿದ ಶುಭಸಂದೇಶವನ್ನು ನೆನಪಿಗೆ ತಂದುಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿದ್ದೀರಿ. ಅದರಲ್ಲಿ ನೆಲೆಯಾಗಿ ನಿಂತಿದ್ದೀರಿ. ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಡವಾಗಿ ವಿಶ್ವಾಸಿಸಿದರೆ ನೀವು ಜೀವೋದ್ದಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು. ‌ನಾನು ಪಡೆದುಕೊಂಡಿದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಗ ಮಾಡಿದರು. ಅವರನ್ನು ಭೂಸ್ಥಾಪನೆ ಮಾಡಲಾಯಿತು. ಅದೇ ಗ್ರಂಥದ ಪ್ರಕಾರ ಮೂರನೆಯ ದಿನ ಅವರು ಪುನರುತ್ದಾನ ಹೊಂದಿದರು. ಆನಂತರ ಕೇಫನಿಗೂ ಹನ್ನೆರಡು ಮಂದಿಗೂ ಕಾಣಿಸಿಕೊಂಡರು. ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚಿನ ಮಂದಿ ಸಹೋದರರಿಗೆ ಪ್ರತ್ಯಕ್ಷರಾದರು. ಅವರಲ್ಲಿ ಕೆಲವರು ಸತ್ತುಹೋಗಿದ್ದರು ಬಹು ಮಂದಿ ಇದಿಂಗೂ ಬದುಕಿದ್ದಾರೆ. ಅದಾದ ಮೇಲೆ ಯಕೋಬನಿಗೂ ಆನಂತರ ಪ್ರೇಷಿತರೆಲ್ಲರಿಗೂ ಕಾಣಿಸಿಕೊಂಡರು. ಕಟ್ಟಕಡೆಗೆ ದಿನ ತುಂಬುವ ಮೊದಲೇ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡರು.


ಕೀರ್ತನೆ: 19:2-3,4-5
 ಶ್ಲೋಕ:  ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ

 ಶುಭಸಂದೇಶ: ಯೊವಾನ್ನ 14:6-14 


ಯೇಸು ತಮ್ಮ ಶಿಷ್ಯರಿಗೆ ಇಂತೆಂದರು: "ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು. ನೀವು ನನ್ನನ್ನು ಅರಿತವರಾಗಿದ್ದರೆ ನನ್ನ ಪಿತನನ್ನು ಕೂಡ ಅರಿಯುತ್ತಿದ್ದಿರಿ. ಈಗಿನಿಂದ ಅವರನ್ನು ನೀವು ಅರಿತವರಾಗಿದ್ದೀರಿ ಹಾಗು ಕಂಡೂ ಇದ್ದೀರಿ," ಎಂದು ನುಡಿದರು. ಆಗ ಫಿಲಿಪ್ಪನು, "ಪ್ರಭೂ, ನಮಗೆ ಪಿತನನ್ನು ತೋರಿಸಿ: ಅಷ್ಟೆ ಸಾಕು,"ಎಂದನು. ಅದಕ್ಕೆ ಉತ್ತರವಾಗಿ ಯೇಸು, "ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆಂಬುದನ್ನು ನೀನು ಅರಿತುಕೊಳ್ಳಲಿಲ್ಲವೇ? ನನ್ನನ್ನು ನೋಡಿದವನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, "ನಮಗೆ ಪಿತನನ್ನು ತೋರಿಸಿ" ಎಂದು ಹೇಗೆ ಕೇಳುತ್ತೀ?  ನಾನು ಪಿತನಲ್ಲಿ ಇದ್ದೇನೆ. ಪಿತನು ನನ್ನಲ್ಲಿ ಇದ್ದಾರೆ," ಇದನ್ನು ನೀನು ವಿಶ್ವಾಸಿಸುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ವಿಶ್ವಾಸಿಸಿರಿ; ಇಲ್ಲವೇ, ನಾನು ಸಾಧಿಸಿದ ಸುಕೃತ್ಯಗಳ ನಿಮಿತದಿಂದಾದರು ವಿಶ್ವಾಸಿಸಿರಿ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿ ವಿಶ್ವಾಸವುಳ್ಳವನು ನಾನು ಸಾಧಿಸುದ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೆ ಏಕೆ, ಅವುಗಳಿಗಿಂತಲೂ ಮಹತ್ತಾದವುಗಳನ್ನು ಸಾಧಿಸುವನು. ಏಕಂದರೆನಾನು ಪಿತನ ಬಳಿಗೆ ಹೋಗುತ್ತೇನೆ. ಹೀಗೆ ಪಿತನಿಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು. ಹೌದು, ನನ್ನ ಹೆಸರಿನಲ್ಲಿ  ನೀವು ಏನನ್ನು ಕೇಳದರೂ ನಾನು ಅದನ್ನು ಮಾಡಿಯೇ ತ್ತೀರುವೆನು," ಎಂದರು.

02.05.2018

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:1-6 

 ಜುದೇಯದಿಂದ ಕೆಲವು ಜನರು ಅಂತಿಯೋಕ್ಯಕ್ಕೆ ಬಂದು ಅಲ್ಲಿನ ಭಕ್ತವಿಶ್ವಾಸಗಳಿಗೆ, "ಮೋಶೆಯ ನೀಯಮದಂತೆ ನೀವು ಸುನ್ನತಿ ಮಾಡಿಸಿಕೊಂಡ  ಹೊರತು ಜೀವೋದ್ದಾರ ಪಡಿಯಲಾರಿರಿ," ಎಂದು ಬೋಧಿಸತೊಡಗಿದರು. ಈ ವಿಷಯವಾಗಿ ಅವರಿಗೂ ಪೌಲ ಮತ್ತು ಬಾರ್ನಬರಿಗೂ ಭಿನ್ನಾಭಿಪ್ರಾಯ ಉಂಟಾಗಿ ತೀವ್ರ ವಿವಾದವೆದ್ದಿತು. ಆದುದರಿಂದ ಈ ಸಮಸ್ಯಯ ಬಗ್ಗೆ ಪೌಲ ಮತ್ತು ಬಾರ್ನಬರು ಅಂತಿಯೋಕ್ಯದ ಇನ್ನೂ ಕೆಲವರ ಸಮೇತ ಜೆರುಸಲೇಮಿಗೆ ಹೋಗಿ ಪ್ರೇಷಿತರನ್ನೂ ಪ್ರಮುಖರನ್ನೂ ಕಾಣಬೇಕೆಂದು ತೀರ್ಮಾನಿಸಲಾಯಿತು. ಅಂತೆಯೇ ಕ್ರೈಸ್ತಸಭೆ ಅವರನ್ನು ಬೀಳ್ಕೊಟ್ಟಿತು. ಅವರು ಫೆನಿಷ್ಯ ಹಾಗೂ ಸಮಾರಿಯದ ಮಾರ್ಗವಾಗಿ ಪ್ರಯಾಣಮಾಡುತ್ತಾ ಅಲ್ಲಿಯ ಭಕ್ತವಿಶ್ವಾಗಳಿಗೆ ಅನ್ಯಧರ್ಮೀಯರು ಹೇಗೆ ಕ್ರೈಸ್ತರಾದರಂಬುದನ್ನು ವಿವರಿಸಿದರು. ಇದನ್ನು ಕೇಳಿದ ಭಕ್ತಾದಿಗಳು ಸಂತೋಷಭರಿತರಾದರು. ಪೌಲ, ಬಾರ್ನಬ ಮತ್ತು ಸಂಗಡಿಗರು ಜೆರುಸಲೇಮಿಗೆ ಆಗಮಿಸಿದಾಗ, ಅಲ್ಲಿಯ ಕ್ರೈಸ್ತಸಭೆ ಪ್ರೇಷಿತರ ಹಾಗು ಪ್ರಮುಖರ ಸಮೇತ ಅವರನ್ನು ಸ್ವಾಗತಿಸಿತು. ಆಗ ಅವರು, ದೇವರು ತಮ್ಮೊಡನೆ ಇದ್ದು, ಸಾಧಿಸಿದ ಎಲ್ಲಾ ಕಾರ್ಯಗಳನ್ನು ವರದಿ ಮಾಡಿದರು. ಫರಿಸಾಯ ಪಂಥಕ್ಕೆ ಸೇರಿದ ಕಲವು ಭಕ್ತರು ಮಾತ್ರ ಎದ್ದುನಿಂತು, ಅನ್ಯಧರ್ಮೀಯರು ಸುನ್ನತಿ ಮಾಡಿಸಿಕೊಳ್ಳಲೇಬೇಕು, ಅವರು ಮೋಶೆಯ ನಿಯಮಗಳನ್ನು ಅನುಸರಿಸುವಂತೆ ಆಜ್ಞೆ ಮಾಡಲೇಬೇಕು," ಎಂದರು. ಈ ಸಮಸ್ಯೆಯನ್ನು ಪರಿಶೀಲಿಸಲು ಪ್ರೇಷಿತರು ಮತ್ತು ಸಭಾಪ್ರಮುಖರು ಸಭೆ ಸೇರಿದರು.

 ಕೀರ್ತನೆ: 122:1-2,3-4ab,4cd-5
ಶ್ಲೋಕ: ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ ಆಯಿತೆನಗೆ ಆಂನಂದ ಜನರೆನ್ನಕರೆದಾಗ.

 ಶುಭಸಂದೇಶ: ಯೊವಾನ್ನ 15:1-8 

 "ನಾನೇ ನಿಜವಾದ ದ್ರಾಕ್ಷಾಬಳ್ಳಿ. ನನ್ನ ಪಿತನೇ ತೋಟಗಾರ. ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅದನ್ನು ಸವರಿ ಶುದ್ದಗೊಳಿಸುವರು. ನೀವಾದರೋ, ನಾನು ನಿಮ್ಮೊಡನೆ ಆಡಿದ ಮಾತಿನಿಂದಾಗಿ ಸವರಿದ ಕವಲುಗಳಂತೆ ಶುದ್ದರಾಗಿದ್ದೀರಿ. ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನು ನಿಮ್ಮಲ್ಲಿ ನೆಲೆಗೊಂಡಿರುವೆನು.ಕವಲು ಮೂಲಬಳ್ಳಿಯಲ್ಲಿಒಂದಾಗಿ ನೆಲಸದಿದ್ದರೆ ತನ್ನಷ್ಟಕ್ಕೆ ತಾನೇ ಫಲಕೊಡಲಾಗದು. ಹಾಗಯೇ ನೀವೂ ಕೂಡ ನನ್ನಲ್ಲಿ ಒಂದಾಗಿ ನೆಲಸದಿದ್ದರೆ ಫಲಕೊಡಲಾರಿರಿ. ಹೌದು, ನಾನೇ ದ್ರಾಕ್ಷಾಬಳ್ಳಿ; ನೀವೇ ಅದರ ಕವಲುಬಳ್ಳಿಗಳು. ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅಂಥವನು ಸಮೃದ್ದಿಯೂಗಿ ಫಲಕೊಡುವನು. ಏಕೆಂದರೆ, ನನ್ನಿದ ಬೇರ್ಪಟ್ಟು ನಿಮ್ಮಿಂದ ಏನೂ ಮಾಡಲಾಗದು. ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಆವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟು ಹಾಕಲಾಗುವುದು. ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು. ನೀವು ಸಮೃದ್ದಿಯಾಗಿ ಫಲಕೊಟ್ಟು ನನ್ನ ಶಿಷ್ಯರಾಗಿ ಬೆಳಗುವುದರಿಂದಲೇ ನನ್ನ ಪಿತನ ಮಹಿಮ ಪ್ರಕಟವಾಗುವುದು." ಎಂದು ಯೇಸುಸ್ವಾಮಿ ನುಡಿದರು.

01.05.2018

ಮೊದಲನೇ ವಾಚನ: ಆದಿಕಾಂಡ 1:26-2:3 
 ಕೊಲೊಸ್ಸೆಯರಿಗೆ 3:14-15, 17,23-24/ 
 ಪ್ರೇಷಿತರ ಕಾರ್ಯಕಲಾಪಗಳು 14:19-28) 

  ದೇವರು, "ನಮ್ಮಂತೆಯೇ ಇರುವ ಹಾಗು ನಮ್ಮನ್ನು ಹೋಲುವ ಮನುಷ್ಯರನ್ನು ಉಟುಂಮಾಡೋಣ ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ದೊಡ್ಡ- ಚಿಕ್ಕ ಸಾಕುಪ್ರಾಣಿ ಹಾಗು ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ಮೇಲೆಯೂ ದೊರೆತನ ಮಾಡಲಿ," ಎಂದರು. ಹೀಗೆ ದೇವರು: ಸೃಷ್ಟಿಸಿದರು ನರರನ್ನು ತಮ್ಮ ಹೋಲಿಕೆಯಲ್ಲಿ ಸೃಷ್ಟಿಸಿದರವರನ್ನು ದೇವಾನುರೂಪದಲ್ಲಿ ಸೃಷ್ಟಿಸಿದರವರನ್ನು ಸ್ತ್ರೀಪುರುಷರನ್ನಾಗಿ. ಅವರನ್ನು ದೇವರು ಆಶೀರ್ವದಿಸಿ, "ನೀವು ಅಭಿವೃದ್ದಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ. ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮುದ್ರದ ಮೀನುಗಳ  ಮೇಲೆಯೂಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಢಿರಿ. ಇನ್ನೂ, ಭೂಮಿಯಲ್ಲಿರುವ ಎಲ್ಲಾ ತರದ ದವಸ ಧಾನ್ಯಗಳನ್ನೂ ಹಣ್ಣು ಹಂಪಲುಗಳನ್ನೂ ನಿಮಗೆ ಅಹಾರವಾಗಿ ಕೊಟ್ಟಿದ್ದೇನೆ. ಇದಲ್ಲದೆ, ಭೂಮಿಯ ಮೇಲೆ ತಿರುಗಾಡುವ ದೊಡ್ಡ ಚಿಕ್ಕ ಮೃಗಗಳಿಗೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ನೆಲದಲ್ಲಿ ಹರಿದಾಡುವ ಕ್ರಿಮಿ ಕೀಟಗಳಿಗೂ ಹುಲ್ಲು ಸೊಪ್ಪುಗಳನ್ನು ಅಹಾರವಾಗಿ ಕೊಟ್ಟಿದ್ದೇನೆ." ಎಂದು ಹೇಳಿದರು. ಹಾಗೆಯೇ ಆಯಿತು. ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚನ್ನಾಗಿತ್ತು. ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು. ಪರಲೋಕ- ಭೂಲೋಕಗಳೂ ಅವುಗಳಲ್ಲಿ ಇರುವ ಸಮಸ್ತವೂ ಹೀಗೆ ನಿರ್ಮಿತವಾದವು. ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು. ಆ ಏಳನೆಯ ದಿನವು ಪರಿಶುದ್ದವಾಗಿರಲಿ ಎಂದು ಆಶೀರ್ವದಿಸಿದರು. ತಮ್ಮ ಸೃಷ್ಟಿಕಾರ್ಯವನ್ನೆಲ್ಲ ಮುಗಿಸಿ ಆ ದಿನದಂದು ವಿಶ್ರಮಿಸಿಕೊಂಡ ಕಾರಣ ಹಾಗೆ ಮಾಡಿದರು.

 ಕೀರ್ತನೆ 90:3-6, 12-13, 14-17
 ಶ್ಲೋಕ ನಾವು ಕೈಗೊಳ್ಳುವ ಕರ್ಯಗಳು ಸಫಲವಾಗಲಿ, ಓ ಪ್ರಭೂ!

 ಶುಭಸಂದೇಶ: ಮತ್ತಾಯ 23:54-58 (ಯೊವಾನ್ನ 14:27-31) 

 ಯೇಸು ತಮ್ಮ ಸ್ವಂತ ಊರಿಗೆ ಮರಳಿ ಬಂದು ಅಲ್ಲಯ ಪ್ರಾರ್ಥನಾಮಂದಿರದಲ್ಲಿ ಭೋಧನೆ ಮಡಿದರು. ಅದನ್ನು ಕೇಳುತ್ತಿದ್ದ ಜನರು ಆಶ್ಚರ್ಯಚಕಿತರಾಗಿ, "ಈ ಪರಿಜ್ಞಾನ ಇವನಿಗೆಲ್ಲಿಂದ ಬಂತು? ಈ ಮಹತ್ಕಾರ್ಯಗಳನ್ನು ಇವನು ಮಾಡುವುದಾದರೂ ಹೇಗೆ? ಇವನು ಆ ಬಡಗಿಯ ಮಗನಲ್ಲವೇ? ಮರಿಯಳು ಇವನ ತಾಯಲ್ಲವೇ? ಯಕೋಬ, ಜೋಸೆಫ್, ಸಿಮೋನ, ಯೂದ ಇವರು ಇವನ ಸೋದರರಲ್ಲವೇ? ಇವನ ಸೋದರಿಯರೆಲ್ಲಾ ಇಲ್ಲೇ ವಾಸಮಾಡುತ್ತಿಲ್ಲವೇ? ಹಾಗಾದರೆ ಇವನಿಗೆ ಇದೆಲ್ಲಾ ಎಲ್ಲಿಂದ ಬಂತು?" ಎಂದು ಮಾತನಾಡಿಕೊಂಡು ಯೇಸುವನ್ನು ತಿರಸ್ಕರಿಸಿದರು. ಅವರಿಗೆ ಯೇಸು, "ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕಿತು; ಆದರೆ ಸ್ವಗ್ರಾಮದಲ್ಲಿ ಹಗೂ ಸ್ವಗೃಹದಲ್ಲಿ ಮಾತ್ರ ಗೌರವ ದೊರಕದು," ಎಂದು ಹೇಳಿದರು. ಅವರ ಅವಿಶ್ವಾಸದ ಕಾರಣ ಯೇಸು ಅದ್ಬುತ ಕಾರ್ಯಗಳನ್ನು ಅಲ್ಲಿ ಹೆಚ್ಚಾಗಿ ಮಾಡಲಿಲ್ಲ.

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...