20.10.2018

ಸಾಧಾರಣ ಕಾಲದ 28ನೇ - ಶನಿವಾರ

ಮೊದಲನೇ ವಾಚನ: ಎಫೆಸಿಯರಿಗೆ: 1 : 15-32

ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ವಿಶ್ವಾಸ ಹಾಗೂ ದೇವಜನರೆಲ್ಲರ ಮೇಲೆ ನಿಮಗಿರುವ ಪ್ರೀತಿಯನ್ನು ಕುರಿತು ಕೇಳಿದ್ದೇನೆ. ಅಂದಿನಿಂದ ನಿಮ್ಮ ಸಲುವಾಗಿ ದೇವರಿಗೆ ಸದಾ ಕೃತಜ್ನತಾಸ್ತುತಿ ಸಲ್ಲಿಸಿ, ನನ್ನ ಪ್ರಾರ್ಥನೆಯಲ್ಲಿ ನಿಮ್ಮನ್ನು ಸ್ಮರಿಸಿಕೊಳ್ಳುತ್ತಿದ್ದೇನೆ. ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ನಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ. ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ಥ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು. ಕ್ರೈಸ್ತವಿಶ್ವಾಸಿಗಳಾದ ನಮ್ಮಲ್ಲಿ ದೇವರು ಸಾಧಿಸಿರುವ ಮಹತ್ಕಾರ್ಯಗಳು ಎಷ್ಟು ಶಕ್ತಿಯುತವಾದವು ಎಂಬುದು ನಿಮಗೆ ಮನದಟ್ಟಾಗಬೇಕು. ಈ ಮಹಾಶಕ್ತಿಯಿಂದಲೇ ದೇವರು ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಿದರು; ಸಕಲ ಅಧಿಕಾರ, ಅಧಿಪತ್ಯ, ಪ್ರಭಾವ ಮತ್ತು ಪ್ರಭುತ್ವ ಇವೆಲ್ಲವುಗಳ ಮೇಲೆ ಯೇಸುಕ್ರಿಸ್ತರೇ ಆಡಳಿತ ನಡೆಸುವಂತೆ ಸ್ವರ್ಗಲೋಕದಲ್ಲಿ ಅವರನ್ನು ತಮ್ಮ ಬಲಗಡೆಯಲ್ಲಿ ಆಸೀನರಾಗಿಸಿದ್ದಾರೆ. ಹೀಗೆ ಇಹದಲ್ಲೂ ಪರದಲ್ಲೂ ಕೀರ್ತಿಗಳಿಸಿದವರೆಲ್ಲರಿಗಿಂತಲೂ ಯೇಸುಕ್ರಿಸ್ತರ ಮಹಿಮೆಯೇ ಸರ್ವಶ್ರೇಷ್ಠವಾದುದು. ದೇವರು ಸಮಸ್ತವನ್ನು ಯೇಸುಕ್ರಿಸ್ತರ ಪಾದದಡಿಯಲ್ಲಿರಿಸಿ, ಅವರನ್ನು ಧರ್ಮಸಭೆಯ ಶಿರಸ್ಸನ್ನಾಗಿ ನೇಮಿಸಿದ್ದಾರೆ. ಧರ್ಮಸಭೆಯೇ ಯೇಸುಕ್ರಿಸ್ತರ ದೇಹ. ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಪರಿಪೂರ್ಣ ಉಳ್ಳದ್ದಾಗಿದೆ.

ಕೀರ್ತನೆ: 8: 2-3ಎಬಿ, 4-5, 6-7
ಶ್ಲೋಕ: ಒಡೆಯನಾಗಿಸಿದೆ ಪ್ರಭೂ ಮಾನವನನು ನಿನ್ನಯ ಕರಕೃತಿಗಳಿಗೆ.

ಶುಭಸಂದೇಶ: ಲೂಕ: 12: 8-12

"ಯಾವನು ಜನರ ಮುಂದೆ ಬಹಿರಂಗವಾಗಿ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಅವನನ್ನು ನರಪುತ್ರನು ಸಹ ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು. ಆದರೆ ಯಾವನು ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸುತ್ತಾನೋ, ಅವನನ್ನು ದೇವದೂತರ ಮುಂದೆ ನಿರಾಕರಿಸಲಾಗುವುದೆಂಬುದು ನಿಶ್ಚಯ. "ಯಾವನಾದರೂ ನರಪುತ್ರನ ವಿರುದ್ದ ಮಾತನಾಡಿದರೆ ಅವನಿಗೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮ ಅವರನ್ನು ದೂಷಿಸುವವನಿಗೆ ಕ್ಷಮೆಯೇ ದೊರಕದು. "ಪ್ರಾರ್ಥನಾಮಂದಿರಗಳಲ್ಲಿ ಮತ್ತು ನ್ಯಾಯಾಧಿಪತಿಗಳ ಹಾಗೂ ದೇಶಾಧಿಕಾರಿಗಳ ಮುಂದೆ ನಿಮ್ಮನ್ನು ಎಳೆದೊಯ್ಯುವಾಗ ಹೇಗೆ ವಾದಿಸಿವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ. ಏಕೆಂದರೆ, ನೀವು ಹೇಳತಕ್ಕದ್ದನ್ನು ಪವಿತ್ರಾತ್ಮ ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡುವರು," ಎಂದರು.

19.10.2018

ಸಾಧಾರಣ ಕಾಲದ 28ನೇ - ಶುಕ್ರವಾರ

ಮೊದಲನೇ ವಾಚನ: ಎಫೆಸಿಯರಿಗೆ:  1:11-14

ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಆದಕಾರಣ ಯೇಸುಕ್ರಿಸ್ತರಲ್ಲಿ ಮೊತ್ತಮೊದಲು ನಿರೀಕ್ಷೆಯನ್ನಿರಿಸಿದ ನಾವು ದೇವರ ಮಹಿಮೆಯನ್ನು ಸ್ತುತಿಸಿ ಹಾಡಬೇಕು. ನೀವು ಸಹ ಸತ್ಯ ವಾಕ್ಯವನ್ನು ಅಂದರೆ, ನಿಮಗೆ ಜೀವೋದ್ದಾರವನ್ನೀಯುವ ಶುಭಸಂದೇಶವನ್ನು ಕೇಳಿ ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಟ್ಟಿರಿ. ದೇವರು ವಾಗ್ದಾನ ಮಾಡಿದ ಪವಿತ್ರಾತ್ಮ ಅವರಿಂದ ಮುದ್ರಿತರಾದಿರಿ. ಹೀಗೆ ದೇವರಿಗೆ ಸೇರಿದವರು ವಿಮೋಚನೆ ಹೊಂದಿ ಸ್ವರ್ಗೀಯ ಸ್ವಾಸ್ಥ್ಯಕ್ಕೆ ಬಾಧ್ಯರಾಗಲು ಆ ಪವಿತ್ರಾತ್ಮರೇ ಆಧಾರ. ಈ ಕಾರಣ ದೇವರಿಗೆ ಮಹಿಮೆ ಸಲ್ಲಲಿ.

ಕೀರ್ತನೆ: 33: 1, 2,4, 5, 12,13
ಶ್ಲೋಕ: ಸ್ವಜನರಾಗಿ ಪ್ರಭು ಆಯ್ದುಕೊಂಡ ಜನತೆ ಧನ್ಯ.

ಶುಭಸಂದೇಶ: ಲೂಕ: 12: 1-7

ಇಷ್ಟರಲ್ಲೇ, ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, "ಫರಿಸಾಯರ ’ಹುಳಿ ಹಿಟ್ಟಿನ’ ಬಗ್ಗೆ ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ. ಮುಚ್ಚುಮರೆಯಾಗಿರುವುದೆಲ್ಲಾ ಬಟ್ಟ ಬಯಲಾಗುವುದು; ಗುಟ್ಟಾಗಿರುವುದೆಲ್ಲಾ ರಟ್ಟಾಗುವುದು. ನೀವು ಕತ್ತಲಲ್ಲಿ ಹೇಳಿದ್ದೆಲ್ಲವನ್ನು ಬೆಳಕಿನಲ್ಲಿ ಕೇಳಲಾಗುವುದು; ಒಳಕೋಣೆಗಳಲ್ಲಿ ಕಿವಿಮಾತಾಗಿ ನೀವು ಹೇಳಿದ್ದೆಲ್ಲವನ್ನು ಮನೆಮಾಳಿಗೆಗಳ ಮೇಲಿಂದ ಸಾರಲಾಗುವುದು," ಎಂದರು. "ಗೆಳೆಯರೇ, ನನ್ನ ಮಾತಿಗೆ ಕಿವಿಗೊಡಿ: ದೇಹವನ್ನು ಕೊಂದುಹಾಕುವವರಿಗೆ ಭಯಪಡಬೇಡಿ. ಕೊಂದುಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು. ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ: ಸತ್ತ ಮೇಲೆ ನರಕದೊಳಕ್ಕೆ ದಬ್ಬಲು ಅಧಿಕಾರವುಳ್ಳಾತನಿಗೆ ಭಯಪಡಿ. ಹೌದು, ಆತನಿಗೆ ಭಯಪಡಿರೆಂದು ನಿಮಗೆ ಒತ್ತಿ ಹೇಳುತ್ತೇನೆ. ಎರಡು ಕಾಸಿಗೆ ಐದು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೇ? ಆದರೂ ಅವುಗಳಲ್ಲಿ ಒಂದನ್ನೂ ದೇವರು ಮರೆಯುವುದಿಲ್ಲ. ಅಷ್ಟು ಮಾತ್ರವಲ್ಲ, ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು," ಎಂದರು ಯೇಸುಸ್ವಾಮಿ.

18.10.2018

ಸಾಧಾರಣ ಕಾಲದ 29ನೇ - ಗುರುವಾರ

ಮೊದಲನೇ ವಾಚನ: 2 ತಿಮೊಥೇಯನಿಗೆ: 4: 10-177

ದೇವನು ಇಹ ಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಇಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ. ಲೂಕನು ಮಾತ್ರ ನನ್ನ ಜೊತೆಯಿದ್ದಾನೆ. ನೀನು ಬರುವಾಗ ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ. ಅವನ ಸೇವೆ ನನಗೆ ಅಗತ್ಯವಾಗಿದೆ. ತುಖಿನನ್ನು ನಾನು ಎಫೆಸಕ್ಕೆ ಕಳುಹಿಸಿದ್ದೇನೆ. ನೀನು ಬರುವಾಗ ತ್ರೋವದಲ್ಲಿ ನಾನು ಕರ್ಪನ ಬಳಿ ಬಿಟ್ಟುಬಂದ ನನ್ನ ಮೇಲಂಗಿಯನ್ನು ತೆಗೆದುಕೊಂಡು ಬಾ. ನನ್ನ ಕೆಲವು ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಸುರುಳಿಗಳನ್ನೂ ತಪ್ಪದೆ ತೆಗೆದುಕೊಂಡು ಬಾ. ಕಂಚುಗಾರನಾದ ಅಲೆಗ್ಸಾಂಡರನು ನನಗೆ ಬಹಳ ಕೇಡುಮಾಡಿದ್ದಾನೆ. ಪ್ರಭು ಅವನ ಕೃತ್ಯಗಳಿಗೆ ತಕ್ಕ ಶಿಕ್ಷೆಯನ್ನು ವಿಧಿಸುವರು. ನೀನು ಅವನ ವಿಷಯದಲ್ಲಿ ಎಚ್ಚರಿಕೆಯಿಂದಿರು. ನಮ್ಮ ಬೋಧನೆಗೆ ಅವನು ಕಟುವಾದ ವಿರೋಧಿ ಆಗಿದ್ದಾನೆ. ನಾನು ಮೊದಲನೆಯ ಸಾರಿ ವಿಚಾರಣೆಗೆ ಒಳಗಾಗಿ ಪ್ರತಿವಾದಿಸುತ್ತಿದ್ದಾಗ ಯಾರೂ ನನ್ನ ಪರವಾಗಿ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈ ಬಿಟ್ಟರು. ದೇವರು ಅವರನ್ನು ಕ್ಷಮಿಸಲಿ. ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮಿಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.

ಕೀರ್ತನೆ: 145: 10-11, 12-13, 17-18, 19
ಶ್ಲೋಕ: ಪ್ರಭೂ, ನಿನ್ನ ಭಕ್ತಸಮೂಹವು ಪ್ರಸಿದ್ದಪಡಿಸುವುದು ನಿನ್ನ ರಾಜ್ಯದ ಮಹತ್ವವನು.

ಶುಭಸಂದೇಶ: ಲೂಕ: 10: 1-9

ಇದಾದ ಮೇಲೆ, ಯೇಸುಸ್ವಾಮಿ ಇನ್ನೂ ಎಪ್ಪತ್ತೆರಡು ಮಂದಿಯನ್ನು ನೇಮಿಸಿ ಅವರನ್ನು ಇಬ್ಬಿಬ್ಬರನ್ನಾಗಿ ತಾವೇ ಹೋಗಲಿದ್ದ ಊರುಗಳಿಗೂ ಸ್ಥಳಗಳಿಗೂ ಮುಂದಾಗಿ ಕಳಿಸಿದರು. ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, "ಬೆಳೆಯೇನೋ ಹೇರಳವಾಗಿದೆ; ಕೊಯ್ಲುಗಾರರೋ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ  ಯಜಮಾನನನ್ನು ಬೇಡಿಕೊಳ್ಳಿ. ಹೋಗಿರಿ, ತೋಳಗಳ ನಡುವೆ ಕುರಿಮರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಹಣದ ಚೀಲವನ್ನಾಗಲಿ, ಜೋಳಿಗೆಯನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗದಿರಿ. ದಾರಿಯಲ್ಲಿ ಯಾರಿಗೂ ವಂದನೋಪಚಾರಗಳನ್ನು. ಮಾಡಿಕೊಂಡಿರಬೇಡಿ. ನೀವು ಯಾವ ಮನೆಗೆ ಹೋದರೂ, "ಈ ಮನೆಗೆ ಶಾಂತಿ," ಎಂದು ಆಶೀರ್ವಾದ ಮಾಡಿ. ಶಾಂತಿ ಪ್ರೀಯನು ಅಲ್ಲಿದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನೆಲಸುವುದು. ಇಲ್ಲವಾದರೆ, ಅದು ನಿಮಗೆ ಹಿಂದಿರುಗುವುದು. ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು. ನೀವು ಯಾವ ಊರಿಗೆ ಹೋದರೂ ಜನರು ನಿಮ್ಮನ್ನು ಸ್ವಾಗತಿಸಿದಾಗ, ಅವರು ಬಡಿಸಿದ್ದನ್ನು ಭುಜಿಸಿರಿ. ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. "ದೇವರ ಸಾಮ್ರಾಜ್ಯ ನಿಮ್ಮನ್ನು ಸಮೀಪಿಸಿದೆ," ಎಂದು ತಿಳಿಸಿರಿ ಎಂದರು.

17.10.2018

ಸಾಧಾರಣ ಕಾಲದ 28ನೇ - ಬುಧವಾರ

ಮೊದಲನೇ ವಾಚನ: ಗಲಾತ್ಯರಿಗೆ: 5: 18-25

ನೀವು ಪವಿತ್ರಾತ್ಮ ನಡೆಸುವ ಮಾರ್ಗದಲ್ಲಿ ನಡೆಯುವವರಾದರೆ, ಧರ್ಮಶಾಸ್ತ್ರದ ವಿಧಿನಿಯಮಗಳಿಗೆ ನೀವು ಅಧೀನರಲ್ಲ. ದೈಹಿಕ ವ್ಯಾಮೋಹದ ದುಷ್ಪರಿಣಾಮಗಳು ತಿಳಿದೇ ಇವೆ: ಹಾದರ, ಅಶುದ್ದತೆ, ಕಾಮುಕತನ, ವಿಗ್ರಹಾರಾಧನೆ, ಮಾಟಮಂತ್ರ, ಹಗೆತನ, ಜಗಳ, ಹೊಟ್ಟೆಕೆಚ್ಚು, ಕ್ರೋಧ, ಸ್ವಾರ್ಥಭೇದ, ಪಕ್ಷಪಾತ, ಮತ್ಸರ, ಕುಡುಕತನ, ದುಂದೌತಣ - ಇತ್ಯಾದಿಗಳು. ಇಂಥ ಕೃತ್ಯಗಳನ್ನು ಮಾಡುವವರು ದೇವರ ಸಾಮ್ರಾಜ್ಯಕ್ಕೆ ಬಾಧ್ಯಾರಲ್ಲ ಎಂದು ಈಗಾಗಲೇ ನಿಮ್ಮನ್ನು ಎಚ್ಚರಿಸಿದ್ದೇನೆ; ಈಗಲೂ ಎಚ್ಚರಿಸುತ್ತೇನೆ. ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುದೆಂದರೆ: ಪ್ರೀತಿ, ಆನಂದ, ಶಾಂತಿಸಮಧಾನ, ಸಹನೆ, ದಯೆ, ಸದ್ಗುಣ, ಪಾಮಾಣಿಕತೆ, ಸೌಜನ್ಯ, ಸಂಯಮ - ಇಂಥವುಗಳೇ. ಇವುಗಳನ್ನು ಯಾವ ಧರ್ಮಶಾಸ್ತ್ರವೂ ಅಕ್ಷೇಪಿಸುವುದಿಲ್ಲ. ಕ್ರಿಸ್ತಯೇಸುವಿಗೆ ಸೇರಿದ ಎಲ್ಲರೂ ತಮ್ಮ ದೈಹಿಕ ವ್ಯಾಮೋಹವನ್ನು, ಅದರ ಆಶಾಪಾಶಗಳ ಹಾಗೂ ದುರಿಚ್ಚೆಗಳ ಸಮೇತ ಶಿಲುಬೆಗೆ ಜಡಿದುಬಿಟ್ಟಿದ್ದಾರೆ. ಪವಿತ್ರಾತ್ಮ ನಮ್ಮ ಜೀವಾಳವಾಗಿದ್ದರೆ, ಅವರೇ ನಮ್ಮ ಜೀವನದ ಮಾರ್ಗದರ್ಶಿಯೂ ಆಗಿರಬೇಕು.


ಕೀರ್ತನೆ: 1: 1-2, 3, 4, 6
ಶ್ಲೋಕ: ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ; ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.

ಶುಭಸಂದೇಶ: ಲೂಕ: 11: -42-46

"ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದಿನ, ಸದಾಪು ಮುಂತಾದ ಪಲ್ಯಗಳಲ್ಲೂ ಹತ್ತರಲ್ಲಿ  ಒಂದು ಪಾಲು ಸಲ್ಲಿಸುತ್ತೀರಿ, ಸರಿ. ಆದರೆ ನ್ಯಾಯನೀತಿಯನ್ನೂ ದೇವರ ಪ್ರೀತಿಯನ್ನೂ ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಅನುಷ್ಠಾನಕ್ಕೆ ತರಬೇಕಾಗಿತ್ತು. "ಫರಿಸಾಯರೇ, ನಿಮಗೆ ಧಿಕ್ಕಾರ! ಪ್ರಾರ್ಥನಾ ಮಂದಿರಗಳಲ್ಲಿ ಪ್ರಧಾನ ಆಸನಗಳನ್ನೂ ಪೇಟೆ ಬೀದಿಗಳಲ್ಲಿ ವಂದನೋಪಚಾರಗಳನ್ನೂ ಅಪೇಕ್ಷಿಸುತ್ತೀರಿ. ಅಯ್ಯೋ, ನಿಮಗೆ ಧಿಕ್ಕಾರ! ನೀವು ನೆಲಸಮವಾದ ಸಮಾಧಿಗಳಂತೆ ಇದ್ದೀರಿ. ಸಮಾಧಿಗಳೆಂದು ತಿಳಿಯದೆಯೆ ಜನರು ಅವುಗಳ ಮೇಲೆ ನಡೆದಾಡುತ್ತಾರೆ," ಎಂದರು. ಇದನ್ನು ಕೇಳಿದ ಒಬ್ಬ ಧರ್ಮಶಾಸ್ತ್ರಜ್ನನು, "ಭೋಧಕರೇ, ನೀವು ಹೀಗೆ ಮಾತನಾಡುವುದರಿಂದ ನಮ್ಮನ್ನೂ ಖಂಡಿಸಿದಂತಾಯಿತು," ಎಂದನು. ಅದಕ್ಕೆ ಯೇಸು, "ಶಾಸ್ತ್ರಜ್ನರೇ, ನಿಮಗೂ ಧಿಕ್ಕಾರ! ಹೊರಲಾಗದ ಹೊರೆಗಳನ್ನು ನೀವು ಜನರ ಮೇಲೆ ಹೇರುತ್ತೀರಿ; ನೀವಾದರೋ ನಿಮ್ಮ ಕಿರು ಬೆರಳಿನಿಂದ ಕೂಡ ಅವುಗಳನ್ನು ಮುಟ್ಟುವುದಿಲ್ಲ," ಎಂದರು.

16.10.2018

ಸಾಧಾರಣ ಕಾಲದ 28ನೇ - ಮಂಗಳವಾರ

ಮೊದಲನೇ ವಾಚನ: ಗಲಾತ್ಯರಿಗೆ: 5: 1-6

ನಾವು ಮುಕ್ತ ಸ್ವಾತಂತ್ರ್ಯದಿಂದ ಬಾಳಬೇಕೆಂದು ಕ್ರಿಸ್ತಯೇಸು ನಮ್ಮನ್ನು ಬಿಡುಗಡೆ ಮಾಡಿದರು. ಆದ್ದರಿಂದ ದೃಢವಾಗಿರಿ. ಗುಲಾಮಗಿರಿಯ ನೊಗಕ್ಕೆ ಪುನಃ ಕೊರಳನ್ನು ಒಡ್ಡದಿರಿ. ಪೌಲನಾದ ನಾನು ಹೇಳುವುದನ್ನು ಕೇಳಿ: ನೀವು ಸುನ್ನತಿ ಮಾಡಿಸಿಕೊಂಡರೆ ಕ್ರಿಸ್ತ ಯೇಸುವಿನಿಂದ ನಿಮಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಸುನ್ನತಿ ಮಾಡಿಸಿಕೊಳ್ಳುವ ಪ್ರತಿಯೊಬ್ಬನೂ ಇಡೀ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಲು ಬದ್ದನಾಗಿದ್ದಾನೆ ಎಂದು ಪುನಃ ನಿಮಗೆ ನಾನು ಒತ್ತಿ ಹೇಳುತ್ತೇನೆ. ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರ ಮೂಲಕವೇ ದೇವರೊಡನೆ ಸತ್ಸಂಬಂಧ ಪಡೆಯಬೇಕೆಂದಿರುವ ನೀವು ಕ್ರಿಸ್ತಯೇಸುವಿನಿಂದ ಬೇರ್ಪಟ್ಟಿದ್ದೀರಿ. ದೈವಾನುಗ್ರಹದಿಂದ ದೂರವಾಗಿದ್ದೀರಿ. ನಾವಾದರೋ ಪವಿತ್ರಾತ್ಮರ ಮುಖಾಂತರ ವಿಶ್ವಾಸದಿಂದ ದೇವರೊಂದಿಗೆ ಸತ್ಸಂಬಂಧವನ್ನು ಹೊಂದುತ್ತೇವೆಂಬ ನಿರೀಕ್ಷೆ ಉಳ್ಳವರಾಗಿದ್ದೇವೆ; ಈ ನಿರೀಕ್ಷೆ ಸಫಲವಾಗುವುದನ್ನು ಎದುರುನೋಡುತ್ತಿದ್ದೇವೆ. ಕ್ರಿಸ್ತ ಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಕೀರ್ತನೆ: 119: 41, 43, 44, 45, 47, 48
ಶ್ಲೋಕ: ದೊರಕಲಿ ಪ್ರಭೂ ನನಗೆ, ನಿನ್ನ ಕರುಣೆ.

ಶುಭಸಂದೇಶ: ಲೂಕ: 11: 37-41

ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಗಿಸಿದಾಗ, ಫರಿಸಾಯನೊಬ್ಬನು ಅವರನ್ನು ಊಟಕ್ಕೆ ಆಮಂತ್ರಿಸಿದನು. ಯೇಸು ಒಳಕ್ಕೆ ಊಟಕ್ಕೆ ಕುಳಿತುಕೊಂಡರು. ಊಟಕ್ಕೆ ಮುಂಚೆ ಅವರು ಕೈ ತೊಳೆಯದೆ ಹೋದುದನ್ನು ಕಂಡು ಫರಿಸಾಯನು ಚಕಿತನಾದನು. ಆಗ ಯೇಸು, "ಫರಿಸಾಯರಾದ ನೀವು ಲೋಟ ಹಾಗೂ ಊಟದ ತಟ್ಟೆಗಳ ಹೊರಭಾಗವನ್ನು ಶುಚಿ ಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಲೋಭದಿಂದಲೂ ಕೆಡುಕಿನಿಂದಲೂ ತುಂಬಿದೆ. ಮೂರ್ಖರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನು ಮಾಡಲಿಲ್ಲವೇ? ನಿಮ್ಮ ತಟ್ಟೆ ಲೋಟಗಳಲ್ಲಿ ಇರುವುದನ್ನು ಮೊಟ್ಟ ಮೊದಲು ದಾನಮಾಡಿರಿ. ಆಗ ಸಮಸ್ತವೂ ನಿಮಗೆ ಶುದ್ದಿಯಾಗಿರುವುದು," ಎಂದರು.

15.10.2018

ಸಾಧಾರಣ ಕಾಲದ 28ನೇ - ಸೋಮವಾರ

ಮೊದಲನೇ ವಾಚನ: ಗಲಾತ್ಯರಿಗೆ: 4: 22-24, 26-27, 31-5:1

ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು: ಒಬ್ಬನು ದಾಸಿಯಿಂದ ಹುಟ್ಟಿದವನು; ಇನ್ನೊಬ್ಬನು ಧರ್ಮಪತ್ನಿಯಿಂದ ಹುಟ್ಟಿದವನು. ದಾಸಿಯ ಮಗ ಪ್ರಕೃತಿ ಸಹಜವಾಗಿ ಹುಟ್ಟಿದವನು; ಧರ್ಮಪತ್ನಿಯ ಮಗನಾದರೋ ವಾಗ್ದಾನದ ಫಲವಾಗಿ ಹುಟ್ಟಿದವನು. ಇದೊಂದು ಅಲಂಕಾರ ರೂಪ. ಆ ಇಬ್ಬರು ಸ್ತ್ರಿಯರು ಎರಡು ಒಡಂಬಡಿಕೆಗಳಿಗೆ ಸದೃಶ್ಯರಾಗಿದ್ದಾರೆ. ಒಂದು, ಸೀನಾಯ್ ಪರ್ವತದಲ್ಲಿ ಮಾಡಲಾದ ಒಡಂಬಡಿಕೆ; ಅದು ದಾಸತ್ವಕ್ಕೆ ಮಕ್ಕಳನ್ನು ಹೆರುತ್ತದೆ. ಅದನ್ನು ಸೂಚಿಸುವವಳೇ ದಾಸಿ ಹಾಗರಳು. ಆದರೆ ಸ್ವರ್ಗೀಯ ಜೆರುಸಲೇಮ್ ದಾಸಿ ಅಲ್ಲ. ಸ್ವತಂತ್ರಳು, ಈಕೆಯೇ ನಮ್ಮ ತಾಯಿ. "ಸಂತಾನವಿಲ್ಲದ ಸ್ತ್ರಿಯೇ ಸಂತೋಷಿಸು ಪ್ರಸವ ವೇದನೆಯನರಿಯದವಳೇ, ಹರ್ಷೋದ್ಗಾರ ಮಾಡು ಗಂಡನುಳ್ಳವಳಿಗಿಂತ ಕೈಬಿಟ್ಟವಳ ಸಂತಾನ ಹೆಚ್ಚು," ಎಂದು ಪವಿತ್ರಗ್ರಂಥದಲ್ಲೇ ಲಿಖಿತವಾಗಿದೆ. ಹೌದು, ಪ್ರಿಯ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಧರ್ಮಪತ್ನಿಯ ಮಕ್ಕಳು. ನಾವು ಮುಕ್ತ ಸ್ವಾತಂತ್ರ್ಯದಿಂದ ಬಾಳಬೇಕೆಂದು ಕ್ರಿಸ್ತ ಯೇಸು ನಮ್ಮನ್ನು ಬಿಡುಗಡೆ ಮಾಡಿದರು. ಆದ್ದರಿಂದ ದೃಢವಾಗಿರಿ. ಗುಲಾಮಗಿರಿಯ ನೊಗಕ್ಕೆ ಪುನಃ ಕೊರಳನ್ನು ಒಡ್ಡದಿರಿ. 

ಕೀರ್ತನೆ: 113: 1ಬಿ-2, 3-4, 5ಎ, 6-7
ಶ್ಲೋಕ: ಪ್ರಭುವಿನ ಸಿರಿನಾಮವು ಪಾವನವಾಗಲಿ ಎಂದೆಂದಿಗು.

ಶುಭಸಂದೇಶ: ಲೂಕ: 11: 29-32

ಜನರ ಗುಂಪು ಹೆಚ್ಚುತ್ತಿದ್ದಾಗ ಯೇಸುಸ್ವಾಮಿ ಹೀಗೆಂದು ಮುಂದುವರಿಸಿದರು: "ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತ ಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು. ಹೇಗೆಂದರೆ, ನಿನಿವೆ ನಗರದ ಜನರಿಗೆ ಪ್ರವಾದಿ ಯೋನನು ಸಂಕೇತವಾದಂತೆ ನರಪುತ್ರನು ಈ ಸಂತತಿಗೆ ಸಂಕೇತವಾಗಿರುವನು. "ದೈವ ತೀರ್ಪಿನ ದಿನ ದಕ್ಷಿಣ ದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತುಕೊಂಡು ಇವರನ್ನು ಅಪರಾಧಿಗಳೆಂದು ತೋರಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೇಶದ ಕಟ್ಟಕಡೆಯಿಂದ ಬಂದಳು, ಆದರೆ ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ. ತೀರ್ಪಿನ ದಿನ ನಿನಿವೆ ನಗರದವರು  ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿ ಎಂದು ತೋರಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ."

14.10.2018

ವರ್ಷದ 28ನೆಯ ಭಾನುವಾರ

ಮೊದಲನೆಯ ವಾಚನ
ಸುಜ್ಞಾನ ಗ್ರಂಥದಿಂದ ವಾಚನ                                                                          7: 7-11
ಜ್ಞಾನದ ಮುಂದೆ ಸಿರಿಸಂಪತ್ತು ಶೂನ್ಯವೆಂದು ಅರಿತುಕೊಂಡೆ.
ಇಂತಿರಲು ನಾನು ಮಾಡಿದೆ ಪ್ರಾರ್ಥನೆ, ಕೊಡಲಾಯಿತು ನನಗೆ ತಿಳುವಳಿಕೆ
ನಾನು ಮೊರೆಯಿಟ್ಟೆ ದೇವರಿಗೆ, ಸುಜ್ಞಾನವೆಂಬ ಚೈತನ್ಯೆ ಬಂದಳು ನನ್ನ ಬಳಿಗೆ.
ರಾಜದಂಡ, ಸಿಂಹಾಸನಕ್ಕೂ ಮಿಗಿಲಾಗಿ ಅವಳನ್ನು ಇಷ್ಟಪಟ್ಟೆ
ಅವಳ ಮುಂದೆ ಸಿರಿಸಂಪತ್ತು ಶೂನ್ಯವೆಂದು ಅರಿತುಕೊಂಡೆ.
ಅವಳ ಮುಂದೆ, ಭೂಮಿಯ ಚಿನ್ನವೆಲ್ಲ ಉಸುಬಿನ ಕಣದಂತೆ,
ಅಮೂಲ್ಯ ರತ್ನವು ಸಾಟಿಯಲ್ಲ, ಬೆಳ್ಳಿಯೂ ಮಣ್ಣಿನ ಮುದ್ದೆಯಂತೆ.
ಆರೋಗ್ಯ ಸೌಂದರ್ಯಗಳಿಗಿಂತ ಹೆಚ್ಚಾಗಿ ಅವಳನ್ನು ಪ್ರೀತಿಸಿದೆ
ಬೆಳಕಿಗಿಂತ ಅವಳ ಕುಂದದ ಕಾಂತಿಯನ್ನೇ ಆಯ್ದುಕೊಂಡೆ.
ಅವಳೊಂದಿಗೆ ಉತ್ತಮ ವಸ್ತುಗಳೆಲ್ಲವೂ ಬಂದವು
ಅವಳ ಕೈಯಲ್ಲಿತ್ತು ಅಗಣಿತವಾದ ಐಶ್ವರ್ಯವು.
                                                                                                ದೇವರ ವಾಕ್ಯವಿದು
ಕೀರ್ತನೆ                                                                                       90:12-17  14
ಶ್ಲೋಕ : ಉದಯದಲಿ ತೋಯಿಸೆಮ್ಮನು ನಿನ್ನ ಕೃಪೆಯಿಂದ |


ಎರಡನೆಯ ವಾಚನ
ಹಿಬ್ರಿಯರಿಗೆ ಬರೆದ ಪತ್ರದಿಂದ ವಾಚನ                                                                4:12-13

ದೇವರ ವಾಕ್ಯ ಹೃದಯದ ಆಶೆ ಆಲೋಚನೆಗಳನ್ನು ವಿವೇಚಿಸುವಂತದ್ದು.” ದೇವರ ವಾಕ್ಯ ಜೀವಂತವಾದುದು, ಕ್ರಿಯಾತ್ಮಕವಾದುದುಎಂಥ ಇಬ್ಬಾಯಿ ಕತ್ತಿಗಿಂತಲೂ ಹರಿತವಾದುದುಪ್ರಾಣ ಮತ್ತು ಆತ್ಮಗಳ, ಕೀಲು 
ಮತ್ತು ಮಜ್ಜೆಗಳ ಭೇದವನ್ನು ಛೇದಿಸುವಂತಾದ್ದು ;
ಹೃದಯದ ಆಶೆ ಆಲೋಚನೆಗಳನ್ನು ವಿವೇಚಿಸುವಂತಾದ್ದು.
ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ,
ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ.
ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.
- ದೇವರ ವಾಕ್ಯವಿದು.

ಘೋಷಣೆ                                                                                     ಯೊವಾನ್ನ 8:12
ಅಲ್ಲೆಲೂಯ, ಅಲ್ಲೆಲೂಯ !
ನಾನೇ ಜಗಜ್ಯೋತಿ; ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ;
ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.
ಅಲ್ಲೆಲೂಯ !


ಶುಭಸಂದೇಶ
ಸಂತ ಮಾರ್ಕನು ಬರೆದ ಶುಭಸಂದೇಶದಿಂದ ವಾಚನ                                       10:17-30
ನಿನ್ನ ಆಸ್ತಿಯನ್ನೆಲ್ಲಾ ಮಾರಿ ಬಂದು, ನನ್ನನ್ನು ಹಿಂಬಾಲಿಸು.
ಯೇಸುಸ್ವಾಮಿ ಪ್ರಯಾಣವನ್ನು ಮುಂದುವರಿಸಿದರು. ದಾರಿಯಲ್ಲೊಬ್ಬನು ಅವರ ಬಳಿಗೆ ಓಡಿ ಬಂದು ಮೊಣಕಾಲೂರಿ, ಒಳ್ಳೆಯ ಗುರುವೇ, ಅಮರ ಜೀವವು ನನಗೆ ಪ್ರಾಪ್ತಿಯಾಗಬೇಕಾದರೆ ನಾನೇನು ಮಾಡಬೇಕು? ಎಂದು ಕೇಳಿದನು. ನೀನು ನನ್ನನ್ನು ಒಳ್ಳೆಯವನೆಂದು ಕರೆಯುವುದೇಕೆ? ದೇವರೊಬ್ಬರನ್ನು ಬಿಟ್ಟರೆ ಬೇರೆ ಯಾರು ಒಳ್ಳೆಯವರಲ್ಲ. ದೈವಾಜ್ಞೆಗಳು ನಿನಗೆ ತಿಳಿದೇ ಇವೆ. ನರಹತ್ಯೆ ಮಾಡಬೇಡ, ವ್ಯಭಿಚಾರ ಮಾಡಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ಮೋಸಮಾಡಬೇಡ, ನಿನ್ನ ತಂದೆತಾಯಿಗಳನ್ನು ಗೌರವಿಸು”, ಎಂದು ಯೇಸು ಉತ್ತರವಿತ್ತರು. ಅದಕ್ಕೆ ಅವನು, “ಗುರುದೇವಾ, ನಾನು ಬಾಲ್ಯದಿಂದಲೇ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ,” ಎಂದು ಹೇಳಿದನು. ಆಗ ಯೇಸು ಅವನನ್ನು ಮಮತೆಯಿಂದ ಈಕ್ಷಿಸಿ, “ನೀನು ಮಾಡಬೇಕಾದ ಕಾರ್ಯವೊಂದು ಬಾಕಿ ಇದೆ. ಹೋಗು, ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು. ಯೇಸುವಿನ ಈ ಮಾತನ್ನು ಕೇಳುತ್ತಲೇ ಅವನ ಮುಖ ಪೆಚ್ಚಾಯಿತು. ಅವನು ಖಿನ್ನಮನಸ್ಕನಾಗಿ ಅಲ್ಲಿಂದ ಹೊರಟು ಹೋದನು. ಏಕೆಂದರೆ ಅವನಿಗೆ ಅಪಾರ ಆಸ್ತಿಯಿತ್ತು. ಆಗ ಯೇಸುಸ್ವಾಮಿ ಸುತ್ತಲೂ ನೋಡಿ, ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಐಶ್ವರ್ಯವುಳ್ಳವರಿಗೆ ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದು ಎಷ್ಟೊಂದು ಕಷ್ಟ!” ಎಂದರು. ಅವರ ಈ ಮಾತನ್ನು ಕೇಳಿದ ಶಿಷ್ಯರು ಬೆರಗಾದರು. ಯೇಸು ಪುನಃ ಅವರಿಗೆ, “ಮಕ್ಕಳೇ, ದೇವರ ಸಾಮ್ರಾಜ್ಯವನ್ನು ಸೇರುವುದು ಎಷ್ಟು ಕಷ್ಟ! ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಸೇರುವುದಕ್ಕಿಂತಲೂ ಒಂಟೆಯ ಸೂಜಿಗಣ್ಣಲ್ಲಿ ನುಸುಳುವುದು ಸುಲಭ.” ಎಂದರು. ಇದನ್ನು ಕೇಳಿದ ಮೇಲಂತೂ ಶಿಷ್ಯರಿಗೆ ಅಪರಿಮಿತ ಆಶ್ಚರ್ಯವಾಯಿತು. “ಹಾಗಾದರೆ ಯಾರು ತಾನೆ ಜೀವೋದ್ಧಾರ ಹೊಂದಲು ಸಾಧ್ಯ?” ಎಂದು ತಮ್ಮತಮ್ಮೊಳಗೇ ಮಾತನಾಡಿಕೊಂಡರು. ಯೇಸು ಅವರನ್ನು ನಿಟ್ಟಿಸಿ ನೋಡಿ, “ಮನುಷ್ಯರಿಗೆ ಇದು ಅಸಾಧ್ಯ, ದೇವರಿಗಲ್ಲ. ದೇವರಿಗೆ ಎಲ್ಲವೂ ಸಾಧ್ಯ,” ಎಂದರು. ಆಗ ಪೇತ್ರನು ಮುಂದೆ ಬಂದು, “ನೋಡಿ, ನಾವು ಎಲ್ಲವನ್ನೂ ಬಿಟ್ಟುಬಿಟ್ಟು ನಿಮ್ಮನ್ನು ಹಿಂಬಾಲಿಸಿದ್ದೇವಲ್ಲ,” ಎಂದನು. ಆಗ ಯೇಸು, “ನಾನು ನಿಶ್ಚಯವಾಗಿ ಹೇಳುತ್ತೇನೆ: ಯಾರಾದರೂ ನನ್ನ ನಿಮಿತ್ತ ಹಾಗೂ ಶುಭಸಂದೇಶದ ನಿಮಿತ್ತ ಮನೆಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುತ್ತಾನೋ ಅವನು, ಈ ಕಾಲದಲ್ಲೇ ಮನೆ, ಅಣ್ಣತಮ್ಮ, ಅಕ್ಕತಂಗಿ, ತಾಯಿ, ಮಕ್ಕಳು, ಹೊಲಗದ್ದೆ ಇವೆಲ್ಲವನ್ನೂ ನೂರ್ಮಡಿಯಷ್ಟು ಪಡೆಯುವನು. ಇವುಗಳೊಂದಿಗೆ ಹಿಂಸೆಯನ್ನೂ ಅನುಭವಿಸಬೇಕಾಗುವುದು’ ಅದಲ್ಲದೆ ಮುಂದಿನ ಲೋಕದಲ್ಲಿ ಅಮರ ಜೀವವನ್ನು ಪಡೆಯುವನು,” ಎಂದರು. 
ಪ್ರಭು ಕ್ರಿಸ್ತರ ಶುಭಸಂದೇಶವಿದು

10.09.2026 - ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ

  ಮೊದಲನೇ ವಾಚನ: 1 ಕೊರಿಂಥಿಯರಿಗೆ 8:1-7, 11-13 ವಿಗ್ರಹಗಳಿಗೆ ನೈವೇದ್ಯಮಾಡಿದ ಆಹಾರಪದಾರ್ಥಗಳ ವಿಷಯವಾಗಿ ನಾನು ಹೇಳುವುದೇನೆಂದರೆ: “ನಮಗೆಲ್ಲರಿಗೂ ಜ್ಞಾನೋದಯವಾಗಿದೆ” ...