08.02.2019 - ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯ ತೀರ್ಪಿಗೆ ಗುರಿಯಾಗುತ್ತಾರೆ

ಮೊದಲನೇ ವಾಚನ: ಹಿಬ್ರಿಯರಿಗೆ  13:1-8

ಸೋದರ ಪ್ರೀತಿಯಲ್ಲಿ ನೆಲೆಯಾಗಿ ನಿಲ್ಲಿರಿ. ಅತಿಥಿ  ಸತ್ಕಾರ ಮರೆಯದಿರಿ. ಅದನ್ನು ಮಾಡುವಾಗ ಅರಿಯದೆ ಕೆಲವರು ದೇವದೂತರನ್ನೇ ಉಪಚರಿಸಿದ್ದಾರೆ. ಸೆರೆಯಲ್ಲಿರುವವರನ್ನು ಸ್ಮರಿಸಿಕೊಳ್ಳಿ. ಅವರ ಸಂಗಡ ನೀವೂ ಸೆರೆಯಲ್ಲಿರುವಂತೆ ಭಾವಿಸಿಕೊಳ್ಳಿ. ಅನ್ಯಾಯಕ್ಕೆ ಒಳಗಾಗಿರುವವರನ್ನು ಜ್ಞಾಪಕ ದಲ್ಲಿಟ್ಟುಕೊಳ್ಳಿ. ಅನ್ಯಾಯಕ್ಕೆ ಒಳಗಾಗಬಲ್ಲ ದೇಹವೂಂದು ನಿಮಗೂ ಸಹ ಇದೆಯಲ್ಲವೇ? ವಿವಾಹ ಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಪ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯ ತೀರ್ಪಿಗೆ ಗುರಿಯಾಗುತ್ತಾರೆ. ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. "ಎಂದೆದಿಗೂ ನಾನು ನಿನ್ನ ಕೈ ಬಿಡಲಾರೆ, ತ್ಯಜಿಸಲಾರೆ," ಎಂದು ದೇವರೇ ಹೇಳಿದ್ದಾರೆ. ಆದ್ದರಿಂದ, "ಸರ್ವೇಶ್ವರ ನನಗೆ ಸಹಾಯಕ, ನಾನು ಭಯಪಡೆನು; ಮಾನವನು ನನಗೇನು ಮಾಡಬಲ್ಲನು?" ಎಂದು ನಾವು ಧೈರ್ಯದಿಂದ ಹೇಳಲು ಸಾಧ್ಯ. ದೇವರ ವಾಕ್ಯವನ್ನು ನಿಮಗೆ ಹೇಳಿಕೊಟ್ಟ ಹಿಂದಿನ ಸಭಾ ನಾಯಕರನ್ನು ಮರೆಯಬೇಡಿ. ಅವರು ಹೇಗೆ ಬಾಳಿದರು, ಎಂಥ ಮರಣವನ್ನು ಪಡೆದರು ಎಂಬುದನ್ನು ಕುರಿತು ಆಲೋಚಿಸಿರಿ. ಅವರ ವಿಶ್ವಾಸ ನಿಮಗೆ ಆದರ್ಶವಾಗಿರಲಿ, ಯೇಸುಕ್ರಿಸ್ತರು, ನಿನ್ನೆ ಇದ್ದ ಹಾಗೆಯೇ ಇಂದು ಎಂದೆಂದೂ ಇದ್ದಾರೆ.

 ಕೀರ್ತನೆ: 27:1, 3, 5, 8, 9
 ಶ್ಲೋಕ: ನನಗೆ ಬೆಳಕು, ನನಗೆ ರಕ್ಷೆ ಪ್ರಭುವೇ, ನಾನಾರಿಗೂ ಅಳುಕೆನು

 ಶುಭಸಂದೇಶ: ಮಾರ್ಕ 6:14-29

ಇಷ್ಟರಲ್ಲಿ ಯೇಸುಸ್ವಾಮಿಯ ಹೆಸರು ಮನೆಮಾತಾಯಿತು . ಅದು ಹೆರೋದ ಅರಸನ ಕಿವಿಗೂ ಬಿತ್ತು. ಯೇಸುವಿನ ವಿಚಾರವಾಗಿ ಕೆಲವರು, "ಮಡಿದ ಸ್ನಾನಿಕ ಯೊವಾನ್ನನೇ ಮರಳಿ ಜೀವಂತವಾಗಿ ಬಂದಿದ್ದಾನೆ; ಆದುದರಿಂದಲೇ ಮಹತ್ಕಾರ್ಯಗಳನ್ನು ಮಾಡುವ ಶಕ್ತಿ ಇವನಿಗಿದೆ," ಎನ್ನುತ್ತಿದ್ದರು. ಇನ್ನು ಕೆಲವರು, 'ಈತನೇ ಎಲೀಯನು' ಎಂದು ಮತ್ತೆ ಕೆಲವರು, "ಪ್ರಾಚೀನ ಪ್ರವಾದಿಗಳಂತೆ ಈತನೂ ಒಬ್ಬ ಪ್ರವಾದಿ," ಎಂದು ಹೇಳುತ್ತಿದ್ದರು. ಇದನ್ನೆಲ್ಲಾ ಕೇಳಿದ ಹೆರೋದನು, 'ಹೌದು, ನಾನು ಶಿರಚ್ಛೇದನ ಮಾಡಿದ ಯೊವಾನ್ನನೇ ಮರಳಿ ಜೀವಂತವಾಗಿ ಬಂದಿದ್ದಾನೆ," ಎಂದನು. ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದಿಯಳ ನಿಮಿತ್ತ  ಯೊವಾನ್ನನನ್ನು ಸೆರೆಹಿಡಿಸಿ ಬಂಧನದಲ್ಲಿರಿಸಿದ್ದನು. ಹೆರೋದಿಯಳು ಹರೋದನ ಸಹೋದರ ಫಿಲಿಪ್ಪನ ಧರ್ಮಪತ್ನಿ. ಆದರೂ ಹೆರೋದನು ಆಕೆಯನ್ನು ಹೆಂಡತಿಯಾಗಿ ಇಟ್ಟುಕೊಂಡಿದ್ದನು. ಈ ಕಾರಣ ಯೊವಾನ್ನನು, "ನಿನ್ನ ಸಹೋದರನ ಪತ್ನಿಯನ್ನು ನೀನು ಇಟ್ಟುಕೊಂಡಿರುವುದು ನ್ಯಾಯವಲ್ಲ," ಎಂದು ಪದೇ ಪದೇ ಅವನನ್ನು ಎಚ್ಚರಿಸುತ್ತಿದ್ದನು. ಇದರ ನಿಮಿತ್ತ ಹೆರೋದಿಯಳು ಯೊವಾನ್ನನ ಮೇಲೆ ಹಗೆಯಿಟ್ಟು ಆತನನ್ನು ಕೊಲ್ಲಿಸಬೇಕು ಎಂದಿದ್ದಳು. ಆದರೆ ತನ್ನ ಸೇಡನ್ನು ತೀರಿಸಿಕೊಳ್ಳಲು ಅವಳಿಂದಾಗಿರಲಿಲ್ಲ ಏಕೆಂದರೆ, ಯೊವಾನ್ನನು ಸಂತನು ಹಾಗೂ ಸತ್ಪುರುಷನು ಎಂದು ಹೆರೋದನು ಅರಿತು, ಆತನಿಗೆ ಭಯಪಟ್ಟು ಯಾವ ಅಪಾಯವೂ ಆತನಿಗೆ ಬಾರದಂತೆ ನೋಡಿಕೊಳ್ಳುತ್ತಿದ್ದನು. ಯೊವಾನ್ನನು ಹೇಳುತ್ತಿದ್ದ ಮಾತುಗಳನ್ನು ಕೇಳಿದಾಗಲೆಲ್ಲಾ ಹೆರೊದನ ಮನಸ್ಸು ಅಲ್ಲೋಲ ಕಲ್ಲೋಲವಾಗುತ್ತಿತ್ತು. ಆದರೂ ಆತನ ಮಾತುಗಳನ್ನು ಕಿವಿಗೊಟ್ಟು ಕೇಳುತ್ತಿದ್ದನು. ಕಡೆಗೊಮ್ಮೆ, ಹೆರೋದಿಯಳಿಗೆ  ಅನುಕೂಲವಾದ ಸಂದರ್ಭ ಒದಗಿತು. ಹೆರೋದನು ತನ್ನ ಹುಟ್ಟುಹಬ್ಬದ ದಿನಾಚರಣೆಯಂದು, ಅಸ್ಥಾನಿಕರಿಗೂ ಸೇನಾಧಿಪತಿಗಳಿಗೂ ಗಲಿಲೇಯ ಪ್ರಾಂತ್ಯದ ಪ್ರಮುಖರಿಗೂ ಔತಣ ಕೂಟವನ್ನು ಏರ್ಪಡಿಸಿದನು. ಆ ಸಮಾರಂಭದಲ್ಲಿ ಹೆರೋದಿಯಳ ಮಗಳು ಔತಣ ಶಾಲೆಗೆ ಬಂದು ನರ್ತನ ಮಾಡಿದಳು. ಹೆರೋದನೂ ಅವನ ಜೊತೆಯಲ್ಲಿ ಭೋಜನಕ್ಕೆ ಕುಳಿತ್ತಿದ್ದ ಅತಿಥಿಗಳೂ ಅದನ್ನು ಬಹಾಳವಾಗಿ ಮೆಚ್ಚಿಕೊಂಡರು. ಆಗ ಅರಸ ಹೆರೋದನು ಅವಳಿಗೆ, "ನಿನಗೆ ಏನು ಬೇಕಾದರೂ ಕೇಳು,  ಕೊಡುತ್ತೇನೆ" ಎಂದನು. "ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಅದನ್ನು ನಿನಗೆ ಕೊಡುತ್ತೆನೆ," ಎಂದು ಪ್ರಮಾಣ ಮಾಡಿದನು. ಅವಳು ತನ್ನ ತಾಯಿಯ ಬಳಿಗೆ ಹೋಗಿ, "ಅಮ್ಮಾ, ನಾನು ಏನನ್ನು ಕೇಳಿಕೊಳ್ಳಲಿ?" ಎಂದು ವಿಚಾರಿಸಿದಳು. "ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು," ಎಂದು ಅಕೆ ಮಗಳನ್ನು ಪ್ರೆರೇಪಿಸಿದಳು. ಕೂಡಲೇ ಅವಳು ಅರಸನ ಬಳಿಗೆ ಧಾವಿಸಿ, "ಸ್ನಾನಿಕ ಯೊವಾನ್ನನ ತಲೆಯನ್ನು ಇದೀಗಲೆ ಒಂದು ತಟ್ಟೆಯಲ್ಲಿ ತರಿಸಿಕೊಡಿ; ಇದೇ ನನ್ನ ಬೇಡಿಕೆ," ಎಂದು ಕೇಳಿಕೊಂಡಳು. ಅರಸನಿಗೆ ಅತೀವ ದುಃಖವಾಯಿತು. ಆದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ. ಆದುದರಿಂದ ಅವನು ಒಬ್ಬ ಪಹರೆಯವನನ್ನು ಕರೆದು, ಕೂಡಲೆ ಯೊವಾನ್ನನ ತಲೆಯನ್ನು ತರಬೇಕೆಂದು ಅವನಿಗೆ ಆಜ್ಞೆಮಾಡಿ ಕಳುಹಿಸಿದನು. ಪಹರೆಯವನು ಸೆರೆಮನೆಗೆ ಹೋಗಿ ಯೊವಾನ್ನನ ತಲೆಯನ್ನು ಕತ್ತರಿಸಿ, ಅದನ್ನು ತಟ್ಟೆಯಲ್ಲಿ ಇಟ್ಟು ಹುಡುಗಿಗೆ ತಂದುಕೊಟ್ಟನು. ಅವಳು ಅದನ್ನು ತನ್ನ ತಾಯಿಗೆ ಕೊಟ್ಟಳು. ಇದನ್ನು ಕೇಳಿದ ಯೊವಾನ್ನನ ಶಿಷ್ಯರು ಅಲ್ಲಿಗೆ ಬಂದು ಶವವನ್ನು ತೆಗೆದುಕೊಂಡು ಹೋಗಿ ಸಮಾಧಿ ಮಾಡಿದರು.

ಮನಸಿಗೊಂದಿಷ್ಟು : ಇಂದಿನ ಶುಭ ಸಂದೇಶದ ಹಿನ್ನಲೆಯಲ್ಲಿ ಬೈಬಲ್ ವ್ಯಾಖ್ಯಾನಕಾರರೊಬ್ಬರ ಮಾತಿದು - " ದೇವರ ಪ್ರತಿನಿಧಿಗಳು ಅಧಿಕಾರಸ್ಥರನ್ನು ವಿರೋಧಿಸುವಾಗಲೆಲ್ಲಾ ಗಮನಾರ್ಹವಾದ ಪರಿಣಾಮವನ್ನು ಎದುರಿಸಲೇಬೇಕಾಗುತ್ತದೆ"

ಪ್ರಶ್ನೆ : ಇತಿಹಾಸದಿಂದ  ಹಿಡಿದು ಪ್ರಸ್ತುತದವರೆಗೂ ಈ ಮಾತು ಎಷ್ಟು ನಿಜವಲ್ಲವೇ

07.02.2019 - "ಪ್ರಯಾಣ ದಂಡವೊಂದನ್ನು ಹೊರತು ಇನ್ನೇನನ್ನೂ ತೆಗೆದುಕೊಂಡು ಹೋಗಬೇಡಿ"

ಮೊದಲನೇ ವಾಚನ: ಹಿಬ್ರಿಯರಿಗೆ 12:18-19, 21-24

ನೀವು ಇಸ್ರಯೇಲರಂತೆ ಮುಟ್ಟಬಹುದಾದ ಸೀನಾಯ್ ಬೆಟ್ಟಕ್ಕೆ ಬಂದಿಲ್ಲ. ಅಲ್ಲಿ ಬೆಂಕಿ ಧಗಧಗಿಸುತ್ತಿತ್ತು. ಕಾರ್ಗತ್ತಲು ಕವಿದಿತ್ತು; ಮೋಡದ ಮಬ್ಬು ಮುಸುಕಿತ್ತು. ಬಿರುಗಾಳಿ ಬೀಸುತ್ತಿತ್ತು; ಕಹಳೆಗಳು ಮೊಳಗುತ್ತಿದ್ದವು. ಆಗ ಧ್ವನಿಯೊಂದು ಕೇಳಿಬಂತು. ಅದನ್ನು ಕೇಳಿದವರು, ಇನ್ನೆಂದಿಗೂ ಆ ಧ್ವನಿ ತಮ್ಮೊಂದಿಗೆ ಮತನಾಡುವುದೇ ಬೇಡವೆಂದು ಕೇಳಿಕೊಂಡರು. ಆ ನೋಟ ಎಷ್ಟು ಭಯಂಕರವಾಗಿತೆಂದರೆ, ಮೋಶೆ ಕೂಡ, "ನಾನು ಭಯದಿಂದ ನಡಗುತ್ತಿದ್ದೇನೆ. ಎಂದು ಹೇಳುವಂತಾಯಿತು! ಆದರೆ ನೀವು ಬಂದಿರುವುದು ಸಿಯೋನ್ ಬೆಟ್ಟಕ್ಕೆ, ಜೀವಂತ ದೇವರ ನಗರಕ್ಕೆ; ಸ್ವರ್ಗೀಯ ಜೆರುಸಲೇಮಿಗೆ; ಅಸಂಖ್ಯ ದೇವದೂತರು ಕೂಡಿರುವ ಉತ್ಸವ ಕೂಟಕ್ಕೆ; ಸ್ವರ್ಗದಲ್ಲಿ ದಾಕಲೆಯಾಗಿರುವ ಜೈಷ್ಠಪುತ್ರನ ಸಭೆಗೆ; ನೀವು ಬಂದಿರುವುದು ಸಕಲ ಮಾನವರ ನ್ಯಯ ಮೂರ್ತಿಯಾದ ದೇವರ ಸನ್ನಿಧಿಗೆ; ಸಿದ್ಧಿಗೆ ಬಂದ ಸತ್ಪುರುಷರ ಆತ್ಮಗಳ ಸಮೂಹಕ್ಕೆ ಹೊಸ ಒಡಂಬಡಿಕೆಯ ಮಧ್ಯಸ್ಥರಾದ ಯೇಸುಸ್ವಾಮಿಯ ಬಳಿಗೆ; ಹೇಬೆಲನ ರಕ್ತಕಿಂತಲೂ ಅಮೋಗವಾಗಿ ಮೊರೆಯಿಡುವ ಪ್ರೋಕ್ಷಣಾ ರಕ್ತದ ಬಳಿಗೆ ನೀವು ಬಂದಿದ್ದೀರಿ.

ಕೀರ್ತನೆ: 48:2-3, 3-4, 9, 10-11
ಶ್ಲೋಕ: ನಿನ್ನಚಲ ಪ್ರೀತಿಯನು ದೇವಾ ಸ್ಮರಿಸುವೆವು ನಿನ್ನ ಮಹಾದೇವಾಲಯದೊಳು

ಶುಭಸಂದೇಶ: ಮಾರ್ಕ 6:7-13

ನಂತರ ಯೇಸುಸ್ವಾಮಿ ಸತ್ತಮುತ್ತಲಿನ ಊರುಗಳಿಗೆ ಹೋಗಿ ಜನರಿಗೆ ಪ್ರಬೋಧಿಸಿದರು. ಇದಲ್ಲದೆ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ ದೆವ್ವ ಬಿಡಿಸುವ ಅಧಿಕಾರವನ್ನಿತ್ತು, ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದರು. ಕಳುಹಿಸುವಾಗ, "ಪ್ರಯಾಣ ದಂಡವೊಂದನ್ನು ಹೊರತು ಇನ್ನೇನನ್ನೂ ತೆಗೆದುಕೊಂಡು ಹೋಗಬೇಡಿ. ಬುತ್ತಿ, ಜೋಳಿಗೆ, ಜೇಬಿನಲ್ಲಿ ಹಣ, ಯಾವುದೂ ಬೇಡ. ಪಾದರಕ್ಷೆಯನ್ನು ಮೆಟ್ಟಿಕೊಂಡರೆ ಸಾಕು. ಎರಡು ಅಂಗಿಗಳನ್ನು ತೊಟ್ಟುಕೊಳ್ಳಬೇಡಿ," ಎಂದು ಅಪ್ಪಣೆ ಮಾಡಿದರು. ಇದಲ್ಲದೆ, "ನೀವು ಯಾವುದೇ ಒಂದು ಊರಿಗೆ ಹೋದಾಗ ಆ ಊರನ್ನು ಬಿಡುವವರೆಗೂ ಅತಿಥ್ಯ ನೀಡುವ ಯಾವುದಾದರೂ ಒಂದು ಮನೆಯಲ್ಲೇ ಉಳಿದುಕೊಳ್ಳಿ. ಯಾವುದೇ ಊರಿನ ಜನರು ನಿಮ್ಮನ್ನು ಸ್ವಾಗತಿಸದೆಯೂ ನಿಮ್ಮ ಬೋಧನೆಗೆ ಕಿವಿಗೊಡದೆಯೂ ಹೋದರೆ, ಆ ಊರನ್ನು ಬಿಟ್ಟು ಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿ ಬಿಡಿ. ಅವರ ವಿರುದ್ಧ ಅದು ಸಾಕ್ಷಿಯಾಗಿರಲಿ," ಎಂದರು. ಶಿಷ್ಯರು ಹೊರಟು ಹೋಗಿ, "ಪಶ್ಚತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ," ಎಂದು ಜನರಿಗೆ ಸಾರಿ ಹೇಳಿದರು. ದೆವ್ವ ಹಿಡಿದಿದ್ದ ಅನೇಕರಿಂದ ದೆವ್ವಗಳನ್ನು ಹೊರಗಟ್ಟಿದರು. ತೈಲ ಲೇಪನ ಮಾಡಿ ಅನೇಕ ರೋಗಿಗಳನ್ನು ಗುಣಪಡಿಸಿದರು.

ಮನಸಿಗೊಂದಿಷ್ಟು :  ಕ್ರಿಸ್ತನ ಹಿಂಬಾಲಕರಿಗೆ ಇರಬೇಕಾದ ಮೂರು ಗುಣಗಳನ್ನು ಇಲ್ಲಿ ಕಾಣಬಹುದು. ದಂಡವನ್ನು ಬಿಟ್ಟು ಏನೂ ತೆಗೆದುಕೊಂಡು ಹೋಗದ ಸರಳತೆ, ದೇವರೆಡೆಗಿನ ಪೂರ್ಣ ವಿಶ್ವಾಸ ಹಾಗೂ ಉದಾರತೆ ಬಯಸದೆ ಸ್ವತ; ಉದಾರಿಗಳಾಗಬೇಕಾದುದು. ಕಷ್ಟವಾದ ಈ ಗುಣಗಳನ್ನು ಒಪ್ಪಿಕೊಂಡು ಹೊರಟ ಆ ಶಿಷ್ಯರ ಬದ್ಧತೆ ಚಿಂತನಾರ್ಹ.

ಪ್ರಶ್ನೆ :  ಆ ಮೂರು ಗುಣಗಳು ನಮ್ಮಲ್ಲಿ ಎಷ್ಟು ಪ್ರಮಾಣದಲ್ಲಿದೆ?

06.02.2019 - ಸರ್ವೇಶ್ವರ ಕೊಡುವ ಶಿಕ್ಷೆಯನ್ನು ತಾತ್ಸಾರ ಮಾಡದಿರು

ಮೊದಲನೇ ವಾಚನ: ಹಿಬ್ರಿಯರಿಗೆ 12:4-7, 11-15

ಪಾಪದ ವಿರುದ್ಧ ನೀವು ಕೈಗೊಂಡ ಹೋರಾಟದಲ್ಲಿ ನಿಮ್ಮ ರಕ್ತವನ್ನೇ ಸುರಿಸುವ ಸ್ಥತಿಗೆ ನೀವಿನ್ನೂ ಬಂದಿಲ್ಲ. ಮಕ್ಕಳಿಗೆ ಹೇಳುವಂತೆ ದೇವರು ನಿಮಗೆ ಹೇಳಿರುವ ಎಚ್ಚರಿಕೆಯ ಮಾತನ್ನು ನೀವು ಮರೆತುಬಿಟ್ಟಿರೋ? "ಸುಕುಮಾರ, ಸರ್ವೇಶ್ವರ ಕೊಡುವ ಶಿಕ್ಷೆಯನ್ನು ತಾತ್ಸಾರ ಮಾಡದಿರು; ಅವರು ನಿನ್ನನ್ನು ದಂಡಿಸುವಾಗ ಧೈರ್ಯಗೆಡದಿರು; ಸರ್ವೇಶ್ವರ ತಾವು ಪ್ರೀತಿಸುವವನನ್ನು ಶಿಕ್ಷಿಸುವರು; ತಮಗೆ ಮಗನೆಂದು ಬರಮಾಡಿಕೊಳ್ಳುವವನನ್ನು ದಂಡಿಸುವರು. "ಶಿಸ್ತಿಗಾಗಿ ಶಿಕ್ಷೆಯನ್ನು ಸಹಿಸಿಕೊಳ್ಳಬೇಕು. ದೇವರು ನಿಮ್ಮನ್ನು ಮಕ್ಕಳಂತೆ ನೋಡಿಕೊಳ್ಳುತ್ತಾರೆ. ತಂದೆಯಿಂದ ಶಿಕ್ಷೆಯನ್ನು ಪಡೆಯದ ಮಗನಿದ್ದಾನೆಯೇ? ಯಾವ ಶಿಕ್ಷಯಾದರೂ ತಕ್ಷಣಕ್ಕೆ ಸಿಹಿಯಾಗಿರದೆ ಕಹಿಯಾಗಿಯೇ ಇರುತ್ತದೆ. ಹೀಗೆ ಶಿಸ್ತಿನ ಕ್ರಮಕ್ಕೆ ಒಳಗಾದವರು ಮುಂದಕ್ಕೆ ನ್ಯಾಯನೀತಿಯನ್ನೂ ಶಾಂತಿಸಮಾಧಾನವನ್ನೂ ಪ್ರತಿಫಲವಾಗಿ ಪಡೆಯುತ್ತಾರೆ. ಆದ್ದರಿಂದ, ಜೋತುಬೀಳುವ ನಿಮ್ಮ ಕೈಗಳನ್ನು ಮೇಲೆತ್ತಿ, ಕುಸಿದುಬೀಳುವ ನಿಮ್ಮ ಮೊಣಕಾಲುಗಳನ್ನು ಚೇತರಿಸಿಕೊಳ್ಳಿ. ನೀವು ಹಿಡಿದಿರುವ ಹಾದಿಯನ್ನು ಸರಿಪಡಿಸಿಕೊಳ್ಳಿ. ಆಗ ಕುಂಟುವ ಕಾಲು ಉಳುಕದೆ ವಾಸಿಯಾಗುತ್ತದೆ. ಎಲ್ಲರೊಂದಿಗೂ ಶಾಂತಿ ಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ. ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.

 ಕೀರ್ತನೆ: 103: 1-2, 13-14, 17-18)
 ಶ್ಲೋಕ: ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕ್ಕೂ

 ಶುಭಸಂದೇಶ: ಮಾರ್ಕ 6:1-6

ಯೇಸುಸ್ವಾಮಿ ಅಲ್ಲಿಂದ ಹೊರಟು ತಮ್ಮ ಸ್ವಂತ ಊರಿಗೆ ಹೋದರು‌. ಶಿಷ್ಯರು ಅವರನ್ನು ಹಿಂಬಾಲಿಸಿದರು. ಸಬ್ಬತ್ ದಿನ ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಉಪದೇಶ ಮಾಡತೊಡಗಿದರು. ಕಿಕ್ಕಿರಿದು ನೆರೆದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. " ಇದೆಲ್ಲಾ ಇವನಿಗೆ ಎಲ್ಲಿಂದ ಬಂದಿತು? ಇವನು ಪಡೆದಿರುವ ಜ್ಞಾನವಾದರೂ ಎಂಥಾದ್ದು? ಇವನಿಂದ ಮಹತ್ಕಾರ್ಯಗಳು ಆಗುವುದಾದರೂ ಹೇಗೆ? ಇವನು ಆ ಬಡಗಿಯಲ್ಲವೆ?  ಮರಿಯಳ ಮಗನಲ್ಲವೆ?  ಯಕೋಬ, ಯೋಸೆ, ಯೂದ ಮತ್ತು ಸಿಮೋನರ ಸಹೋದರನಲ್ಲವೆ? ಇವನ ಸಹೋದರಿಯರು ಇಲ್ಲಿಯೇ ವಾಸಮಾಡುತ್ತಿಲ್ಲವೆ?" ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು. ಆಗ ಯೇಸು, "ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು. ಆದರೆ ಸ್ವಗ್ರಾಮದಲ್ಲಿ, ಸ್ವಜನರಲ್ಲಿ, ಸ್ವಗೃಹದಲ್ಲಿ ಗೌರವ ದೊರಕದು," ಎಂದರು. ಕೆಲವು ರೋಗಿಗಳ ಮೇಲೆ ಕೈಯನ್ನಿರಿಸಿ ಅವರನ್ನು ಗುಣಪಡಿದ್ದನ್ನು ಬಿಟ್ಟರೆ ಇನ್ನಾವ ಮಹತ್ತಾದ ಕಾರ್ಯಗಳನ್ನೂ ಅವರು ಅಲ್ಲಿ ಮಾಡಲಾಗಲಿಲ್ಲ. ಆ ಜನರ ವಿಶ್ವಾಸ ಕಂಡು ಯೇಸುವಿಗೆ ಬಹಳ ಅಚ್ಚರಿಯಾಯಿತು.

ಮನಸಿಗೊಂದಿಷ್ಟು :  ಯೇಸು ತಮ್ಮವರಿಂದಲೇ ಅನುಭವಿಸಿದ ಆ ನೋವು, ತಾತ್ಸಾರ ನಮ್ಮಿಂದ ಮತ್ತೆ ಪುನರಾವರ್ತನೆ ಆಗದಂತೆ ನೋಡಿಕೊಳ್ಳುವ ಜವಬ್ದಾರಿ ನಮ್ಮದು. ನಾವು ಕ್ರಿಸ್ತನ ಸ್ವಂತ ಜನ. ಅವರ ವಾಕ್ಯದಂತೆ, ಆಶಯದಂತೆ ನಡೆದುಕೊಳ್ಳದಿರುವುದು ಅವರನ್ನು ಪ್ರಶ್ನೆ ಮಾಡಿದಂತೆ, ಅಗೌರವ ತೋರಿದಂತೆ. ನಮ್ಮ ಅವಿಶ್ವಾಸದಿಂದ ನಮ್ಮ ಬಾಳಲ್ಲಿ ದೇವರ ಮಹತ್ಕಾರ್ಯಗಳು ನಡೆಯದೆ ಹೋಗುವಂತ ವಾತಾವರಣ ಸೃಷ್ಟಿಯಾಗದಿರಲಿ.

ಪ್ರಶ್ನೆ:  ನಮ್ಮ ಸಂಪೂರ್ಣ ಗೌರವ, ವಿಶ್ವಾಸ  ನಮ್ಮ ಪ್ರಭು ಯೇಸುವಿಗೆ ಸಲ್ಲುತ್ತಿದೆಯೇ?

05.02.2019 - "ಮಗಳೇ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ"

ಮೊದಲನೇ ವಾಚನ: ಹಿಬ್ರಿಯರಿಗೆ 12:1-4

ದ ಕಾರಣ ಇಷ್ಟು ಮಂದಿ ಸಾಕ್ಷಿಗಳು ದೊಡ್ಡ  ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನು ಅಂಟಿಕೊಳ್ಳುವ ಪಾಪವನ್ನು ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು ಸ್ಥಿರ ಚಿತ್ತದಿಂದ ಭಾಗವಹಿಸೋಣ. ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನವನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ. ಪಾಪಿಗಳಂದ ತಮಗುಂಟಾದ ಕಠಿಣ ವಿರೋಧವನ್ನು ಯೇಸುಸ್ವಾಮಿ ಹೇಗೆ ಸಹಿಸಿಕೊಂಡರೆಂಬುದನ್ನು  ಮನಸ್ಸಿನಲ್ಲಿಡಿ. ಆಗ ನೀವು ಬೇಸತ್ತು ಎದೆಗುಂದಲಾರಿರಿ. ಪಾಪದ ವಿರುದ್ಧ ನೀವು ಕೈಗೊಂಡ ಹೋರಾಟದಲ್ಲಿ ನಿಮ್ಮ ರಕ್ತವನ್ನೇ ಸುರಿಸುವ ಸ್ಥಿತಿಗೆ ನೀವಿನ್ನೂ  ಬಂದಿಲ್ಲ.

ಕೀರ್ತನೆ: 22:26-27, 28, 30, 31-32
ಶ್ಲೋಕ: ಹರಿವುದು ಸ್ತುತಿ ಭಕ್ತರ ಬಾಯಿಂದ

ಶುಭಸಂದೇಶ: ಮಾರ್ಕ 5:21-43

ಯೇಸುಸ್ವಾಮಿ ದೋಣಿಯನ್ನೇರಿ ಸರೋವರದ ಈಚೆ ದಡಕ್ಕೆ ಮರಳಿದರು. ತೀರವನ್ನು ಸೇರಿದೊಡನೆ ಜನರು ದೊಡ್ಡ ಗುಂಪಾಗಿ ಅವರ ಸುತ್ತಲೂ ನೆರೆದರು. ಪ್ರಾರ್ಥನಾ ಮಂದಿರದ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನ ಹೆಸರು ಯಾಯೀರ. ಅವನು ಯೇಸುವನ್ನು ನೋಡಿದೊಡನೆ ಅವರ ಪಾದಕ್ಕೆರಗಿ, "ನನ್ನ ಪುಟ್ಟ ಮಗಳು ಮರಣಾವಸ್ಥೆಯಲ್ಲಿದ್ದಾಳೆ; ತಾವು ಬಂದು ತಮ್ಮ ಹಸ್ತವನ್ನು ಅವಳ ಮೇಲಿಟ್ಟು, ಅವಳು ಗುಣ ಹೊಂದಿ ಬದುಕುವಂತೆ ಅನುಗ್ರಹಿಸಬೇಕು," ಎಂದು ಬಹಳವಾಗಿ ವಿನಂತಿಸಿದನು. ಯೇಸು ಅವನ ಜೊತೆಯಲ್ಲಿ ಹೊರಟರು. ದೊಡ್ಡ ಜನಸ್ತೋಮವು ಯೇಸುವನ್ನು ಮುತ್ತಿಕೊಂಡು ಅವರ ಜೊತೆಯಲ್ಲೇ ಹೊರಟಿತು. ಹನ್ನೆರಡು ವರ್ಷಗಳಿಂಲೂ ರಕ್ತಸ್ರಾವ ರೋಗದಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ಆ ಗುಂಪಿನಲ್ಲಿದ್ದಳು. ಅನೇಕ ವೈದ್ಯರಿಂದ ಚಿಕಿತ್ಸೆ ಪಡೆದಿದ್ದರೂ ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯ ಮಾಡಿದ್ದರೂ ಅವಳ ರೋಗ ಮಾತ್ರ ಉಲ್ಬಣ ಆಗುತ್ತಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ. ಯೇಸುವಿನ ವಿಷವಾಗಿ ಜನರು ಹೇಳುತ್ತಿದ್ದುದನ್ನು ಆಕೆ ಕೇಳಿ, ಜನರ ಗುಂಪಿನಲ್ಲಿ ಸೇರಿ, ಯೇಸುವನ್ನು ಹಿಂಬಾಲಿಸಿದಳು. "ನಾನು ಅವರ ಉಡುಪನ್ನು ಮುಟ್ಟಿದರೂ ಸಾಕು, ಗುಣ ಹೊಂದುವೆನು" ಎಂದುಕೊಂಡು ಯೇಸುವಿನ ಉಡುಪನ್ನು ಮುಟ್ಟಿದಳು. ಅದನ್ನು ಮುಟ್ಟಿದಾಕ್ಷಣ ಅವಳ ರಕ್ತಸ್ರಾವ ನಿಂತುಹೋಯಿತು. ಕಾಡುತ್ತಿದ್ದ ವ್ಯಾಧಿಯಿಂದ ತಾನು ಗುಣ ಹೊಂದಿದ್ದೇನೆಂದು ಆಕೆಗೆ ಅರಿವಾಯಿತು. ಇತ್ತ ಯೇಸು, ರೋಗವನ್ನು ಗುಣಪಡಿಸುವ ಶಕ್ತಿ ತಮ್ಮಿಂದ ಹೊರ ಹೊಮ್ಮಿದ್ದನ್ನು ತಕ್ಷಣ ತಿಳಿದು, ಸುತ್ತಲಿದ್ದ ಜನರತ್ತ ತಮ್ಮ ದೃಷ್ಟಿಯನ್ನು ಹರಿಸಿ, "ನನ್ನ ಉಡುಪನ್ನು ಮುಟ್ಟಿದವರಾರು?" ಎಂದು ಪ್ರಶ್ನಿಸಿದರು. ಅದಕ್ಕೆ ಶಿಷ್ಯರು, "ತಮ್ಮ ಸುತ್ತಲೂ ಜನರು ಮುತ್ತಿಕೊಂಡಿರುವುದು ತಮಗೆ ತಿಳಿದೇ ಇದೆ. ಆದರೂ ನನ್ನನ್ನು ಮುಟ್ಟಿದವರು ಯಾರು?" ಎಂದು ಕೇಳುತ್ತೀರಲ್ಲಾ" ಎಂದರು. ಆದರೆ ಯೇಸು ತಮ್ಮನ್ನು ಮುಟ್ಟಿದವರು ಯಾರೆಂದು ಗುರುತಿಸಲು ಸುತ್ತಲೂ ನೋಡುತ್ತಿದ್ದರು. ತನ್ನಲ್ಲಿ ಸಂಭವಿಸಿದ್ದನ್ನು ಅರಿತ ಆ ಮಹಿಳೆ ಭಯದಿಂದ ನಡುಗುತ್ತಾ ಮುಂದೆ ಬಂದು ಯೇಸುವಿನ ಪಾದಕ್ಕೆ ಎರಗಿ, ಅವರಿಗೆ ನಡೆದ ಸಂಗತಿಯನ್ನು ತಿಳಿಸಿದಳು. ಯೇಸು ಆಕೆಗೆ, "ಮಗಳೇ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ; ಸಮಾಧಾನದಿಂದ ಹೋಗು, ವ್ಯಾಧಿ ಮುಕ್ತಳಾಗಿ ಆರೋಗ್ಯದಿಂದಿರು," ಎಂದು ಅನುಗ್ರಹಿಸಿದರು. 

ಯೇಸುಸ್ವಾಮಿ ಇನ್ನೂ ಮಾತನಾಡುತ್ತ ಇರುವಾಗಲೇ ಯಾಯೀರನ ಮನೆಯಿಂದ ಕೆಲವರು ಬಂದು ಅವನಿಗೆ, "ನಿಮ್ಮ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುತ್ತೀರಿ?" ಎಂದರು. ಅವರು ಹೇಳಿದ ಮಾತುಗಳನ್ನು ಯೇಸು ಕೇಳಿಯೂ ಅವನ್ನು ಲಕ್ಷಕ್ಕೆ ತೆಗೆದುಕೊಳ್ಳದೆ ಯಾಯಿರನಿಗೆ, "ಭಯಪಡಬೇಡ, ನಿನ್ನಲ್ಲಿ ವಿಶ್ವಾಸ ಒಂದಿದ್ದರೆ ಸಾಕು," ಎಂದರು. ಅನಂತರ ಪೇತ್ರ, ಯಕೋಬ ಹಾಗೂ ಅವನ ಸೋದರ ಯೊವಾನ್ನ, ಇವರನ್ನು ಮಾತ್ರ ತಮ್ಮ ಜೊತೆಯಲ್ಲಿ ಕರೆದುಕೊಂಡು ಯಾಯಿರನ ಮನೆಯನ್ನು ತಲುಪಿದರು. ಅಲ್ಲಿ ಜನರ ಗೋಳಾಟ, ಗೊಂದಲದ ದೃಷ್ಯ ಅವರ ಕಣ್ಣಿಗೆ ಬಿತ್ತು. ಯೇಸು ಮನೆಯೊಳಕ್ಕೆ ಹೋಗಿ,  " ಏತಕ್ಕೆ ಇಷ್ಟೆಲ್ಲಾ ಗಲಭೆ,  ಗೋಳಾಟ? ಬಾಲಕಿ ಸತ್ತಿಲ್ಲ ನಿದ್ರಿಸುತ್ತಿದ್ದಾಳೆ," ಎಂದರು. ಇದನ್ನು ಕೇಳಿದವರು, ಯೇಸುವನ್ನು ಪರಿಹಾಸ್ಯ ಮಾಡಿದರು. ಆದರೆ ಯೇಸು ಎಲ್ಲರನ್ನೂ ಹೊರಕ್ಕೆ ಕಳುಹಿಸಿ ಬಾಲಕಿಯ ತಂದೆ ತಾಯಿಯನ್ನು ಮತ್ತು ತಮ್ಮೊಂದಿಗಿದ್ದ ಮೂವರು ಶಿಷ್ಯರನ್ನು ಮಾತ್ರ ಕರೆದುಕೊಂಡು ಆ ಬಾಲಕಿ ಮಲಗಿದ್ದ ಕೊಠಡಿಯನ್ನು ಪ್ರವೇಶಿಸಿದರು. ಆಕೆಯ ಕೈಹಿಡಿದು, "ತಲಿಥಾಕೂಮ್" ಎಂದರು. ('ಮಗಳೇ ನಿನಗೆ ಹೇಳುತ್ತೇನೆ, ಎದ್ದೇಳು" ಎಂಬುದು ಆ ಮಾತಿನ ಅರ್ಥ). ಅವಳು ತಟ್ಟನೆ ಎದ್ದು ನಡೆದಾಡತೊಡಗಿದಳು. ಅಲ್ಲಿದ್ದವರೆಲ್ಲರೂ ಆಶ್ಚರ್ಯಭರಿತರಾದರು. ಅವಳಿಗೆ ಹನ್ನೆರೆಡು ವರ್ಷ ವಯಸ್ಸು ಆಗಿತ್ತು. ಈ ವಿಷಯವನ್ನು ಬೇರೆ ಯಾರಿಗೂ ತಿಳಿಸಬಾರದೆಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು. ಬಾಲಕಿಗೆ ತಿನ್ನಲು ಏನಾದರು ಕೊಡುವಂತೆ ತಿಳಿಸಿದರು.

ಮನಸಿಗೊಂದಿಷ್ಟು : ನಾವೂ ಸಹಾ ಆ ಸ್ತ್ರೀಯಂತೆ ಗುಣವಾಗದಂತ ಬವಣೆಯಿಂದ ಬಳಲುತ್ತಿರಬಹುದು. ಯಾರದೋ ಮೇಲಿನ ಅಸಹನೆ,  ಕೋಪ, ಮರೆಯಲಾಗದ ಅವಮಾನ, ನೋವು ನಮ್ಮನ್ನು ಕ್ಷಮೆ ನೀಡಲಾಗದಂತೆ ಬಾಧಿಸುತ್ತಿರಬಹುದು. ಯೇಸುವಿನ ಉಡುಪಿನ ತುದಿ ಮುಟ್ಟಿದಂತೆ ಒಂದು ಸಣ್ಣ  ಪ್ರಾರ್ಥನೆ ಅದನ್ನು ಹೋಗಲಾಡಿಸಬಹುದು. ಇಲ್ಲವೇ ಯೇಸುವೇ ಆ ಬಾಲಕಿಯ ಮನೆಗೆ ಬಂದಂತೆ ನಮ್ಮೊಳಗೆ ಬಂದು ಆ ಬಾಧೆಯಿಂದ ’ಎದ್ದೇಳು’ ಎಬ್ಬಿಸಬಹುದು. ಬೇಕಾಗಿರುವುದು ವಿಶ್ವಾಸ. 

ಪ್ರಶ್ನೆ : "ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ" ಎಂದು ಹೇಳಿಸಿಕೊಳ್ಳುವಷ್ಟು ವಿಶ್ವಾಸ ನಮ್ಮಲ್ಲಿದೆಯೇ?

04.02.2019 - ಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ?

ಮೊದಲನೇ ವಾಚನ: ಹಿಬ್ರಿಯರಿಗೆ 11:32-40

ಇನ್ನೂ ಹೇಳಬೇಕೇ? ಗಿಡಿಯೋನ್, ಬಾರಾಕ್, ಸಂಸೋನ್, ಯೆಪ್ತಾಹ, ದಾವೀದ, ಸಾಮುವೇಲ ಇವರನ್ನೂ ಇತರ ಪ್ರವಾದಿಗಳನ್ನೂ ಕುರಿತು ಹೇಳಬೇಕಾದರೆ ನನಗೆ ಸಮಯ ಸಾಲದು. ಇವರು ವಿಶ್ವಾಸದಿಂದಲೇ ರಾಜ್ಯಗಳನ್ನು ಗೆದ್ದರು; ನ್ಯಾಯನೀತಿಯಿಂದ ಆಳಿದರು; ದೇವರಿಂದ  ವಾಗ್ದಾನಗಳನ್ನು ಪಡೆದರು; ಸಂಹಗಳ ಬಾಯನ್ನು ಬಂದಿಸಿದರು. ಅಗ್ನಿಜ್ವಾಲೆಯನ್ನು ಆರಿಸಿದರು; ಖಡ್ಗದ ಬಾಯಿಂದ ತಪ್ಪಿಸಿಕೊಂಡರು; ಬಲಹೀನರಾಗಿದ್ದರೂ ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಶತ್ರುಗಳ ಸೈನ್ಯವನ್ನು ಸದೆಬಡಿದರು. ವಿಶ್ವಾಸದಿಂದಲೇ ಮಹಿಳೆಯರು ಮೃತರಾಗಿದ್ದ ತಮ್ಮವರನ್ನು ಮರಳಿ ಜೀವಂತರಾಗಿ ಪಡೆದರು. ಕೆಲವರು ಇದಕ್ಕಿಂತ ಶ್ರೇಷ್ಠವಾದ ಪುನರುತ್ದಾನವನ್ನು ಪಡೆಯುವ ಉದ್ದೇಶದಿಂದ ಬಿಡುಗಡೆಯನ್ನು ನಿರಾಕರಿಸಿ ಹಿಂಸೆಬಾಧೆಗಳಿಗೆ ತುತ್ತಾಗಿ ಮರಣವನ್ನಪ್ಪಿದರು. ಇನ್ನೂ ಕೆಲವರು ಹಾಸ್ಯ ಪರಿಹಾಸ್ಯ, ಏಟುಪೆಟ್ಟು,  ಸೆರೆಸಂಕಲೆಗಳನ್ನು ಅನುಭವಿಸಿದರು. ಮತ್ತೆ ಕಲವರನ್ನು ಜನರು ಕಲ್ಲೆಸೆದು ಕೊಂದರು; ಗರಗಸದಿಂದ ಸೀಳಿ ಸಾಯಿಸಿದರು; ಖಡ್ಗದಿಂದ ಕಡಿದುಹಾಕಿದರು. ಇನ್ನೂ ಕೆಲವರು ನಿರ್ಗತಿಕರಾಗಿ ಕುರಿ ಮೇಕೆಗಳ ಚರ್ಮಗಳನ್ನು ಹೊದ್ದುಕೊಂಡು ಅಲೆದಾಡಿದರು. ಬಡತನಕ್ಕೂ ಹಿಂಸೆಬಾಧೆಗಳಿಗೂ ಕಷ್ಟಸಂಕಟಗಳಿಗೂ ಈಡಾದರು; ಇಂಥವರಿಗೆ ಈ ಲೋಕ ತಕ್ಕ ಸ್ಥಳವಾಗಿರಲಿಲ್ಲ. ಈ ಕಾರಣದಿಂದ, ಅವರು ಕಾಡು ಬೆಟ್ಟಗಳಲ್ಲೂ ಗುಹೆ ಕಣಿವೆಗಳಲ್ಲೂ ತಲೆಮರೆಸಿಕೊಂಡಿದ್ದರು. ಇವರೆಲ್ಲರೂ ವಿಶ್ವಾಸವುಳ್ಳವರಾದುದರಿಂದಲೇ ಸಜ್ಜನರೆಂದು ಹೆಸರುವಾಸಿಯಾದರು. ಆದರೂ ದೇವರು ವಾಗ್ದಾನಮಾಡಿದ ಸತ್ಪಲಗಳನ್ನು ಸವಿಯಲಿಲ್ಲ. ಏಕೆಂದರೆ ದೇವರು ನಮ್ಮೆಲ್ಲರಿಗೋಸ್ಕರ, ಶ್ರೇಷ್ಠವಾದ ಯೋಜನೆಯೊಂದನ್ನು ರೂಪಿಸಿ, ನಮ್ಮೊಡನೆಯೇ ಅಂದಿನ ವಿಶ್ವಾಸಿಗಳೂ ಸಿದ್ಧಿಗೆ ಬರಬೇಕೆಂದು ಸಂಕಲ್ಪಸಿದರು.

ಕೀರ್ತನೆ: 31:20, 21, 22, 23, 14
ಶ್ಲೋಕ: ಧೈರ್ಯದಿಂದಿರಲಿ ನಿರುತ ನಿಮ್ಮೆಲ್ಲರ ಹೃದಯ

ಶುಭಸಂದೇಶ: ಮಾರ್ಕ 5:1-20

ಅವರೆಲ್ಲರು ಗಲಿಲೇಯ ಸರೋವರವನ್ನು ದಾಟಿ ಆಚೆಯ ದಡದಲ್ಲಿದ್ದ ಗೆರಸೇನರ ಪ್ರಾಂತ್ಯವನ್ನು ಸೇರಿದರು. ಯೇಸುಸ್ವಾಮಿ ದೋಣಿಯಾಂದ ಇಳಿಯುತ್ತಲೇ, ದೆವ್ವ ಹಿಡಿದಿದ್ದ ಒಬ್ಬನು ಸಮಾಧಿಯ ಗುಹೆಯೊಳಗಿಂದ ಅವರ ಎದುರಿಗೆ ಬಂದನು. ಸಮಾಧಿಯ ಗುಹೆಗಳೇ ಅವನಿಗೆ ವಾಸಸ್ಥಳವಾಗಿದ್ದವು. ಅವನನ್ನು ಬಂಧಿಸಲು ಯಾರಿಂದಲೂ ಆಗುತ್ತಿರಲಿಲ್ಲ. ಸಂಕೋಲೆಗಳಿಂದ ಬಂಧಿಸುವುದೂ ಅಸಾಧ್ಯವಾಗಿತ್ತು. ಸರಪಳಿ ಸಂಕೋಲೆಗಳಿಂದ ಅವನನ್ನು ಕಟ್ಟಿದಾಗ ಅವುಗಳನ್ನು ತಂಡುತುಂಡು ಮಾಡುತ್ತಿದ್ದನು. ಅವನನ್ನು ಹತೋಟಿಗೆ ತರುವ ಸಾಮರ್ಥ್ಯ ಯಾರಿಗು ಇರಲಿಲ್ಲ. ಹಗಲಿರುಳೆನ್ನದೆ ಸಮಾಧಿಯ ಗುಹೆಗಳಲ್ಲಿಯೂ ಬೆಟ್ಟಗುಡ್ಡಗಳಲ್ಲಿಯೂ ಅವನು ಅಲೆದಾಡುತ್ತಾ ಕಲ್ಲುಗಳಿಂದ ತನಗೆ ತಾನೇ ಚಚ್ಚಿಕೊಳ್ಳುತ್ತಾ ಇದ್ದನು. ದೂರದಲ್ಲಿ ಬರುತ್ತಿದ್ದ ಯೇಸುಸ್ವಾಮಿಯನ್ನು ಕಂಡು, ಅವನು ಓಡಿಬಂದು ಅವರಿಗೆ ಸಾಷ್ಟಾಂಗವೆರಗಿ, " ದೇವರಾಣೆ ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ," ಎಂದು ಅಬ್ಬರಿಸಿದನು. ಕಾರಣ - ಅವನನ್ನು ಬಿಟ್ಟು ತೊಲಗಬೇಕೆಂದು ಯೇಸು ದೆವ್ವಕ್ಕೆ ಈ ಮೊದಲೇ ಕಟ್ಟಪ್ಪಣೆ ಮಾಡಿದರು. "ನಿನ್ನ ಹೆಸರೇನು?" ಎಂದು ಯೇಸು ಅವನನ್ನು ಕೇಳಲು "ನನ್ನ ಹೆಸರು 'ಗಣ'; ಏಕೆಂದರೆ ನಾವು ಬಹುಮಂದಿ ಇದ್ದೇವೆ," ಎಂದನು.  ಅಲ್ಲದೆ, "ನಮ್ಮನ್ನು ಆ ಪ್ರಾಂತ್ಯದಿಂದ ಹೊರಗಟ್ಟಬೇಡಿ," ಎಂದು ಯೇಸುವನ್ನು ಬಹಾಳವಾಗಿ ಬೇಡಿಕೊಂಡನು. ಸಮೀಪದಲ್ಲೇ ಹಂದಿಗಳ ದೊಡ್ಡ ಹಿಂಡೊಂದು ಬೆಟ್ಟದ ತಪ್ಪಲಲ್ಲಿ ಮೇಯುತ್ತಿತ್ತುಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ?. ಆ ದೆವ್ವಗಳು, "ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸಿಕೊಡಿ," ಎಂದು ಯೇಸುವನ್ನು ಬಹಳವಾಗಿ ಬೇಡಿಕೊಂಡವು. ಅವರು ಹಾಗೆಯೆ ಅಪ್ಪಣೆ ಮಾಡಿದರು. ಕೂಡಲೇ ದೆವ್ವಗಳು ಆ ವ್ಯಕ್ತಿಯಿಂದ ಹೊರಬಂದು ಹಂದಿಗಳೊಳಗೆ  ಹೊಕ್ಕವು. ಇದರ ಪರಾಣಾಮವಾಗಿ ಎರಡು ಸಾವಿರ ಹಂದಿಗಳಿದ್ದ ಆ ಹಿಂಡು, ಬೆಟ್ಟದ ಕಡಿದಾದ ಬದಿಯಿಂದ ಸರೋವರತ್ತ ಧಾವಿಸಿ, ಅದರಲ್ಲಿ ಬಿದ್ದು ಮುಳುಗಿಹೋಯಿತು. ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಊರುಕೇರಿಗಳಲ್ಲಿ ಈ ವಿಷಯವನ್ನು  ತಿಳಿಸಿದರು. ನಡೆದ ಸಂಗತಿ ಏನೆಂಬುದನ್ನು ನೋಡಲು ಜನರು ಹೊರಟು, ಯೇಸುಸ್ವಾಮಿಯ ಬಳಿಗೆ ಬಂದರು. ದೆವ್ವ ಗಣದಿಂದ ಪೀಡಿತನಾಗಿದ್ದವನು ಈಗ ಬಟ್ಟೆಯನ್ನು ತೊಟ್ಟುಕೊಂಡು ಸ್ವಸ್ಥ ಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಅವರೆಲ್ಲರೂ ಗಾಬರಿಗೊಂಡರು. ನಡೆದುದನ್ನು ಕಣ್ಣಾರೆ ನೋಡಿದವರು ದೆವ್ವ ಹಿಡಿದವನು ಸ್ವಸ್ಥನಾದ ವಿಧವನ್ನು ಮತ್ತು ಹಂದಿಗಳಿಗಾದ ಗತಿಯನ್ನು ಅವರಿಗೆ ವಿವರಿಸಿದರು. ಇದನ್ನು ಕೇಳಿದ ಜನರು ಯೇಸುವಿಗೆ, ತಮ್ಮ ಪ್ರಾಂತ್ಯವನ್ನು ಬಿಟ್ಟುಹೋಗಬೇಕೆಂದು ಮನವಿಮಾಡಿಕೊಂಡರು. ಯೇಸು ದೋಣಿಯನ್ನು ಹತ್ತುತ್ತಿದ್ದಾಗ ದೆವ್ವ ಹಿಡಿದಿದ್ದವನು, "ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ," ಎಂದು ಬಿನ್ನವಿಸಿಕೊಂಡನು. ಯೇಸು ಅದಕೊಪ್ಪದೆ, "ನೀನು ನಿನ್ನ ಮನೆಗೂ ನಿನ್ನ ಸ್ವಜನರ ಬಳಿಗೂ ಹೋಗು. ಸರ್ವೇಶ್ವರ ನಿನಗೆ ಎಂಥಾ ಉಪಕಾರ ಮಾಡಿದ್ದಾರೆ, ಎಷ್ಟು ಕರುಣೆ ತೋರಿಸಿದ್ದಾರೆ, ಎಂದು ಅವರಿಗೆ ವಿವರಿಸು," ಎಂದರು. ಅಂತೆಯೇ ಅವನು ಹೊರಟು ಹೋಗಿ, ಯೇಸು ತನಗೆ ಮಾಡಿದ ಮಹದುಪಕಾರವನ್ನು ದೆಕಪೊಲಿ ಎಂಬ ನಾಡಿನಲ್ಲಿ ಪ್ರಕಟಿಸಿದನು. ಕೇಳಿದವರೆಲ್ಲರೂ ಆಶ್ಚರ್ಯಚಕಿತರಾದರು.

ಮನಸಿಗೊಂದಿಷ್ಟು :  "ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ?" ಎಂಬ ಆ ದೆವ್ವ ಪೀಡಿತನ ಮಾತು ಎಷ್ಟೋ ಸಲ ನಮ್ಮ ಮಾತುಗಳ ಸಹ. ಕ್ರಿಸ್ತನ ಮೌಲ್ಯ ಹಾಗೂ ಆಶಯಕ್ಕೆ ವಿರುದ್ಧವಾದ ನಮ್ಮ ಬಾಳನ್ನು ಕ್ರಿಸ್ತ ಪ್ರಶ್ನಿಸಿದಾಗ, ಮನಸಾಕ್ಷಿಯನ್ನು ಅಲ್ಲಾಡಿಸಿದಾಗ ನಮ್ಮ ಮನಸ್ಸು ಲೌಕೀಕತೆಯೆಡೆಗೇ ಹೆಚ್ಚು ಒಲವು ತೋರಿಸುತ್ತಾ, ಈ ಮೇಲಿನ ಮಾತುಗಳು ನಮ್ಮಿಂದ ಹೊರಡುತ್ತದೆ. ಬದಲಾಗಿ ನಮನ್ನು ಎಲ್ಲಾ ದುಷ್ಟತೆಯಿಂದ ತಪ್ಪಿಸು ಎಂಬ ಪ್ರಾರ್ಥನೆ ನಮ್ಮದಾಗಲಿ.

ಪ್ರಶ್ನೆ : ದೇವರು ನಮಗೆ ಮಾಡಿರುವ ಅಸಂಖ್ಯ ಉಪಕಾರಗಳನ್ನು ನಾವು ಧನ್ಯತೆಯಿಂದ ನೆನೆಯುತ್ತಿದ್ದೇವೆಯೇ? ಅದನ್ನು ಪ್ರಕಟಿಸುತ್ತಿದ್ದೇವೆಯೇ?

03.02.2019 - "ಯಾವ ಪ್ರವಾದಿಯು ಸ್ವಗ್ರಾಮದಲ್ಲಿ ಸನ್ಮಾನಿತನಲ್ಲ"


ಮೊದಲನೇ ವಾಚನ: ಯೆರೆಮೀಯ 1: 4-5, 17-19

ಸರ್ವೇಶ್ವರಸ್ವಾಮಿ ವಾಣಿಯನ್ನು ನನಗೆ ದಯಪಾಲಿಸಿದರು: "ನಿನ್ನನ್ನು ತಾಯಿಯ  ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆಯೇ ನಿನ್ನನ್ನು ನಾನು ತಿಳಿದಿದ್ದೆ: ನೀನು ಉದರದಿಂದ ಹೊರ ಬರುವುದಕ್ಕೆ ಮೊದಲೇ ನಿನ್ನನ್ನು ಪವಿತ್ರೀಕರಿಸಿದ್ದೆ; ನಿನ್ನನ್ನು ರಾಷ್ಟ್ರಗಳಿಗೆ ಪ್ರವಾದಿಯನ್ನಾಗಿ ನೇಮಿಸಿದ್ದೇನೆ. ನೀನು ಎದ್ದು ನಡುಕಟ್ಟಿಕೊ, ನಾನು ಆಜ್ಞಾಪಿಸುವುದನ್ನೆಲ್ಲ ಅವರಿಗೆ ತಿಳಿಸು, ಅವರಿಗೆ ಹೆದರಬೇಡ; ಹೆದರಿದರೆ ನಾನೂ ನಿನ್ನನ್ನು ಅವರ ಮುಂದೆ ಹೆದರಿಸುವೆನು. ನಾನು ಹೇಳುವುದನ್ನು ಗಮನದಿಂದ ಕೇಳು. ದಿನ ನಿನ್ನನ್ನು ಜುದೇಯದ ಅರಸರು, ಅಧಿಪತಿಗಳು, ಯಾಜಕರು, ಜನ ಸಾಮಾನ್ಯರು, ಹೀಗೆ ನಾಡಿನವರೆಲ್ಲರನ್ನು ಎದುರಿಸತಕ್ಕವನನ್ನಾಗಿ ಮಾಡಿದ್ದೇನೆ; ಕೋಟೆ ಕೊತ್ತಲಗಳಿಂದ ಸುಸಜ್ಜಿತ ನಗವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ತಾಮ್ರದ ಪೌಳಿಗೋಡೆಯನ್ನಾಗಿಯೂ ನಿನ್ನನ್ನು ಸ್ಥಾಪಿಸಿದ್ದೇನೆ. ನಿನಗೆ ವಿರುದ್ಧವಾಗಿ ಅವರು ಯುದ್ಧಮಾಡುವರು; ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗಿರುವೆನು. ಇದು ಸರ್ವೇಶ್ವರನಾದ ನನ್ನ ನುಡಿ.

ಕೀರ್ತನೆ: 71:1-2, 3-4, 5-6, 15-17
ಶ್ಲೋಕ: ವರ್ಣಿಸುವೆನು ದಿನವೆಲ್ಲ ನನ್ನ ನ್ಯಾಯನೀತಿಯನ್ನು.

ಎರಡನೇ ವಾಚನ: 1 ಕೊರಿಂಥಿಯರಿಗೆ 12:31-13:13

ಶ್ರೇಷ್ಠವಾದ ವರಗಳನ್ನು ನೀವು ಶ್ರದ್ಧಪೂರ್ವಕವಾಗಿ ಅಪೇಕ್ಷಿಸಿರಿ. ನಾನು ನಿಮಗೆ ಇನ್ನೂ ಸರ್ವೋತ್ತಮವಾದ ಮಾರ್ಗವನ್ನು ತೋರಿಸುತ್ತೇನೆ: ಸುರನರರ ನುಡಿಗಳ ನಾನಾಡಬಲ್ಲೆನಾದರೂ ಪರಮ ಪ್ರಿತಿಯೊಂದೆನಗಿಲ್ಲದಿರಲು ನಾ ಕೇವಲ ಗಣಗಣಿಸುವ ಘಂಟೆ, ಝಣಝಣಿಸುವ ಜಾಗಟೆ. ಪ್ರವಾದನೆಯ ವರವೆನಗಿರಬಹುದು, ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನ್ನೇ ಕದಲಿಸುವ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯ ಸಮಾನ. ನನಗಿರುವುದೆಲ್ಲವನು ನಾ ದಾನಮಾಡೆ. ದೇಹವನೇ ಸಜೀವ ದಹಿಸಲು ನೀಡೆ, ನಾನಾಗಿರೆ ಪರಮ ಪೀತಿ ವಿಹೀನ ಏನದು ಜೀವನ, ನನಗೇನದು ಪ್ರಯೋಜನ? ಸಹನೆ ಸೈರಣೆ, ದಯೆದಾಕ್ಷಿಣ್ಯ ಪ್ರೀತಿಯಲ್ಲಿವೆ. ಎಡೆಯಿಲ್ಲ ಅದರಲಿ ಗರ್ವಕೆ, ಮರ್ಮಕೆ, ಮೆರತಕೆ, ಸಿಡುಕಿಗೆ, ಸೊಕ್ಕಿಗೆ, ಸ್ವಾರ್ಥಕೆ, ಸೇಡುಗಳೆಣಿಕೆಗೆ. ನಲಿಯದು ಪ್ರೀತಿ ಅನೀತಿಯಲಿ, ನಲಿಯದಿರದದು ಸತ್ಯದಜಯದಲಿ. ನಂಬುವುದೆಲ್ಲವನು, ನಿರೀಕ್ಷಿಸುವುದೆಲ್ಲವನು, ಸಹಿಸಿಕೊಳ್ಳುವುದು ಸಮಸ್ತವನು ಪ್ರೀತಿಯದೆಂದೂ ಅರಿಯದು ಸೋಲನು. ಅಳಿದುಹೋಗುವುವು ಭವಿಷ್ಯವಾಣಿ, ಗತಿಸಿಹೋಗುವುದು ಬಹುಭಾಷಾ ಶಕ್ತಿ ಹೋಗುವುವು ನಶಿಸಿ ಜ್ಞಾನ, ಬುದ್ಧಿ, ಆದರೆ ಅಮರವಾದುದು ಪರಮ ಪ್ರೀತಿ. ಅಪೂರ್ವವಾದುದು ನಮ್ಮಾ. ಅರಿವೆಲ್ಲ, ಪೂರ್ಣವಾದುದಲ್ಲ ಪ್ರವಾದನವದೆಲ್ಲ; ಪರಿಪೂರ್ಣತೆ ಪ್ರಾಪ್ತವಾಗಲು ಇಲ್ಲವಾಗುವುದು ಅಪೂರ್ಣತೆಯೆಲ್ಲ. ಬಾಲಕ ನಾನಾಗಿರೆ ಆಡಿದೆ, ಮಾತಾಡಿದೆ, ಚಿಂತಿಸಿದೆ, ಸುಖದುಃಖಗಳ ಸವಿದೆ ಬಾಲಕನಂತೆ. ಬಲಿತು ಬೆಳೆದು ಮನುಜನಾದುದೆ ಬಾಲಿಶವಾದುದೆಲ್ಲವನು ಬದಿಗೊತ್ತಿದೆ. ನಾವೀಗ ಕಾಂಬುದು ದರ್ಪಣದ ಬಿಂಬವನು ಮಾಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಮೂರಲಿ ನಾನರಿವೆನು ಅಖಂಡವಾಗಿ. ನಿಲ್ಲುವುವು ನಂಬಿಕೆ, ನಿರೀಕ್ಷೆ, ಪ್ರೀತಿ ನೆಲೆಯಾಗಿ; ಮೂರಲಿ ಪ್ರೀತಿಯೇ ಪರಮೋನ್ನತವೆಂಬುದ ನೀನರಿ.

ಶುಭಸಂದೇಶ: ಲೂಕ 4:21-30

ಆಗ ಯೇಸು, "ನೀವು ಪವಿತ್ರ ವಾಕ್ಯವನ್ನು ಕೇಳುತ್ತಿದ್ದ ಹಾಗೆಯೇ ಅದು ಇಂದು ನೆರವೇರಿತು," ಎಂದು ವಿವರಿಸಲಾರಂಭಿಸಿದರು. ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. "ಇವನು ಜೋಸೆಫನ ಮಗನಲ್ಲವೆ?" ಎಂದು ಮಾತನಾಡಿಕೊಂಡರು. ಆನಂತರ ಯೇಸು ಅವರಿಗೆ, "ವೈದ್ಯನೇ, ಮೊದಲು ನಿನ್ನನ್ನು ನೀನು ಗುಣಪಡಿಸಿಕೊ",  ಎಂಬ ಗಾದೆಯನ್ನು ನೀವು ನಿಸ್ಸಂದೇಹವಾಗಿ  ನನಗೆ ಅನ್ವಯಿಸುವಿರಿ; ಅಲ್ಲದೆ, "ಕಫೆರ್ನವುಮಿನಲ್ಲಿ ನೀನು ಎಂತೆಥ ಮಹತ್ಕಾರ್ಯಗಳನ್ನು ಮಾಡಿದೆ ಎಂದು ನಾವು ಕೇಳಿದ್ದೇವೆ; ಅಂಥವುಗಳನ್ನು ನಿನ್ನ ಸ್ವಂತ ಊರಿನಲ್ಲೂ ಮಾಡು," ಎಂದೂ ಹೇಳುವಿರಿ. ಆದರೆ ಯಾವ ಪ್ರವಾದಿಯು ಸ್ವಗ್ರಾಮದಲ್ಲಿ ಸನ್ಮಾನಿತನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಹಿಂದೆ ನಡೆದ ಒಂದು ಸಂಗತಿಯನ್ನು ಕೇಳಿ: ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಕ್ಷಾಮ ಬಂದೊದಗಿತು. ಆಗ ಇಸ್ರಯೇಲ್ ನಾಡಿನಲ್ಲಿ ಎಷ್ಟೋ ಮಂದಿ ವಿಧವೆಯರಿದ್ದರು. ಅವರಾರ ಬಳಿಗೂ ದೇವರು ಎಲೀಯನನ್ನು ಕಳಿಸಲಿಲ್ಲ. ಸಿದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನ ಒಬ್ಬ ವಿಧವೆಯ ಬಳಿಗೆ ಮಾತ್ರ ಕಳಿಸಿದರು. ಅಂತೆಯೇ, ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಯೇಲ್ ನಾಡಿನಲ್ಲಿ ಅನೇಕ ಕುಷ್ಟರೋಗಿಗಳು ಇದ್ದರು. ಅವರಲ್ಲಿ ಸಿರಿಯ ದೇಶದ ನಾಮನನು ಬಿಟ್ಟು ಮಿಕ್ಕ ಯಾರೂ ಗುಣಮುಖರಾಗಲಿಲ್ಲ," ಎಂದು ಹೇಳಿದರು. ಇದನ್ನು ಕೇಳಿ, ಪ್ರಾರ್ಥನಾಮಂದಿರದಲ್ಲಿ ಇದ್ದ ಎಲ್ಲರೂ ಕಡುಗೋಪಗೊಂಡರು. ಯೇಸುವನ್ನು ಊರ ಹೊರಕ್ಕೆ ಎಳೆದುಕೊಂಡು, ತಮ್ಮ ಊರಿದ್ದ ಗುಡ್ಡದ ತುದಿಗೆ ಕೊಂಡೊಯ್ದು, ಅಲ್ಲಿಂದ ಅವರನ್ನು ಕೆಳಕ್ಕೆ ದಬ್ಬಬೇಕೆಂದಿದ್ದರು. ಯೇಸುವಾದರೋ, ಅವರ ನಡುವೆಯೇ ನಡೆದು, ತಮ್ಮ ದಾರಿ ಹಿಡಿದುಹೋದರು.

ಮನಸ್ಸಿಗೊಂದಿಷ್ಟು : ಕ್ರಿಸ್ತನ ಬೋಧನೆಯನ್ನು ಕೇಳಿ , ಮೆಚ್ಚಿಕೊಂಡಿದ್ದ ಸ್ವಗ್ರಾಮದ ಜನರು , ದೈವ ಅನುಗ್ರಹವು ಅನ್ಯ ಜನರಿಗೂ ದೊರಕುತ್ತದೆ ಎಂಬ ಕ್ರಿಸ್ತನ ಮಾತಿಗೆ ಸಿಟ್ಟಾಗುತ್ತಾರೆ. ಯೇಸುವಿನ ಕಠಿಣ ಮಾತುಗಳು ಅವರಿಗೆ ರುಚಿಸದೆ   ಹೋಗುತ್ತದೆ. ನಮ್ಮ ಬಾಳಿನ ಕಥೆಯೂ . ನಾವು ಮಾತ್ರ ಒಳ್ಳೆಯವರು, ದೇವರ ಅನುಗ್ರಹ ನಮ್ಮ ಮೇಲೆ  ಹೆಚ್ಚು ಎಂಬ ಭಾವನೆ , ಸಣ್ಣ ಅಹಂಕಾರದಲ್ಲೇ ನಾವು ಬದುಕಿರುತ್ತಿದ್ದೇವೆ.  ಇದರ ನಡುವೆ ನಮ್ಮ ಅಂತರಂಗವನ್ನು ಪರಿವರ್ತಿಸಬಲ್ಲ ದೇವರ ಕಠಿಣ ಮಾತುಗಳಿಗೂ ನಾವು ಕಿವಿಯಾಗಬೇಕಾದುದು ಅಗತ್ಯ, ಅನಿವಾರ್ಯ. 


ಪ್ರಶ್ನೆ : ದೇವರ ಎಚ್ಚರಿಕೆಯ ಮಾತುಗಳು ನಮ್ಮನ್ನು ತಲುಪವಷ್ಟು ನಮ್ಮ ಕಿವಿ, ಹೃದಯವನ್ನು ನಾವು ಮುಕ್ತವಾಗಿಸಿಕೊಂಡಿದ್ದೇವೆಯೇ ? 

02.02.2019 - ಆತನು ಬರುವಾಗ ಆತನನ್ನು ಎದುರುಗೊಳ್ಳಬಲ್ಲವನು ಯಾರು?

ಮೊದಲನೇ ವಾಚನ: ಮಲಾಕಿ 3:1-4

ಸೇನಾಧೀಶ್ವರ ಸರ್ವಶ್ವರ ಹೇಳುವುದನ್ನು ಕೇಳಿ: "ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೆನೆ. ನಾನು ಬರಲು ಮಾರ್ಗವನ್ನು ಆತನು ಸಿದ್ದಗೊಳಿಸುವನು. ನೀವು ಎದುರು  ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು."  "ಆದರೆ ಆತನು ಬರುವಾಗ ಆತನನ್ನು ಎದುರುಗೊಳ್ಳಬಲ್ಲವನು ಯಾರು? ಆತನ ದರ್ಶನವನ್ನು ಪಡೆದು ಬದುಕ ಬಲ್ಲವನು ಯಾರು? ಆತನು ಅಕ್ಕಸಾಲಿಗನ ಕುಲುಮೆಯ ಬೆಂಕಿಗೂ ಅಗಸನ ಚೌಳಿಗೂ ಸಮಾನನು. ಬೆಳ್ಳಿಯನ್ನು ಶುದ್ಧೀಕರಿಸುವ ಅಕ್ಕಸಾಲಿಗನಂತೆ ಲೇವಿಯ ವಂಶದವರನ್ನು ಶುದ್ಧಗೊಳಿಸುವನು; ಬೆಳ್ಳಿ ಬಂಗಾರದಂತೆ ಶುದ್ಧೀಕರಿಸುವನು. ಆಗ ಅವರು ಯೋಗ್ಯವಾದ ಕಾಣಿಕೆಗಳನ್ನು ಸರ್ವೇಶ್ವರಸ್ವಾಮಿಗೆ ತಂದೊಪ್ಪಿಸುವರು. ಪೂರ್ವದಿನಗಳಲ್ಲಿ, ಪುರಾತನ ಕಾಲದಲ್ಲಿ ಇದ್ದಂತೆ ಜೂದಾ ಮತ್ತು ಜೆರುಸಲೇಮಿನ ಜನರ ಕಾಣಿಕೆಗಳು ಸ್ವಾಮಿಗೆ ಮೆಚ್ಚುಗೆಯಾಗಿರುವುವು."

ಕೀರ್ತನೆ: 24:7-10
ಶ್ಲೋಕ: ಯಾರಿವನು ಮಹಿಮಾವಂತ ರಾಜಾಧಿರಾಜನು? ಇವನೇ ಪ್ರಭು

ಎರಡನೇ ವಾಚನ: ಹಿಬ್ರಿಯರಿಗೆ 2:14-18

ಇದಲ್ಲದೆ, ಮಕ್ಕಳು ರಕ್ತಮಾಂಸಧಾರಿಗಳಾಗಿರುವುದರಿಂದ ಯೇಸುವು ಅವರಂತೆ ರಕ್ತಮಾಂಸಧಾರಿಯಾದರು. ಹೀಗೆ ಮರಣಾಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ಧವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು. ಅವರು ಉದ್ಧಾರ  ಮಾಡ ಬಂದುದು ಖಂಡಿತವಾಗಿ ದೇವದೂತರನ್ನಲ್ಲ, ಅಬ್ರಹಾಮನ ಸಂತತಿಯನ್ನು. ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು: ಜನರ ಪಾಪ ನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಗಸ್ಥನೂ ಆದ ಪ್ರಧಾನ ಯಾಜಕನಾಗಿರಬೇಕಾಗಿತ್ತು. ಸ್ವತಃ ತಾವೇ ಶೋಧನೆಗೊಳಗಾಗಿ ಯಾತನೆಯನ್ನು ಅನುಭವಿಸಿದ್ದರಿಂದ ಶೋಧನೆಗೊಳಗಾಗುವವರಿಗೆ ನೆರವಾಗಲು ಯೇಸು ಸಮರ್ಥರಾದರು.

 ಶುಭಸಂದೇಶ: ಲೂಕ 2:22-40

ಮೋಶೆ ನಿಯಮದ ಪ್ರಕಾರ ಸೂತಕ ದಿನಗಳು ಮುಗಿದು ಶುದ್ಧೀಕರಣ ದಿನ ಬಂದಾಗ, ತಂದೆ ತಾಯಿಗಳು ಮಗುವನ್ನು ಎತ್ತಿಕೊಂಡು ಜೆರುಸಲೇಮಿಗೆ ಹೋದರು. ಏಕೆಂದರೆ, 'ಮೊದಲು ಜನಿಸಿದ ಪ್ರತಿಯೊಂದು ಗಂಡು ಮಗುವನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕಾಗಿತ್ತು. ಅಲ್ಲದೆ, ಧರ್ಮಶಾಸ್ತ್ರದಲ್ಲೇ ಉಲ್ಲೇಖಿಸಿರುವಂತೆ ಒಂದು ಜೋಡಿ ಬೆಳವಹಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ಬಲಿಯನ್ನಾಗಿ ಅರ್ಪಿಸಬೇಕಾಗಿತ್ತು. ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪರುಷನೂ ದೈವಭಕ್ತನೂ ಆದ  ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು. ಸರ್ವೇಶ್ವರ  ಕಳುಹಿಸಲಿರುವ ಅಭಿಷಿಕ್ತನಾದ ಲೋಕೋದ್ಧಾರಕನ ದರ್ಶನವಾಗುವವರೆಗೆ ತನಗೆ ಸಾವಿಲ್ಲವೆಂದು ಪವಿತ್ರಾತ್ಮರಿಂದಲೇ ಆಶ್ವಾಸನೆ ಪಡೆದಿದ್ದನು. ಪವಿತ್ರಾತ್ಮರಿಂದ ಪ್ರೇರಿತನಾಗಿ ಅವನು ಮಹಾದೇವಾಲಯಕ್ಕೆ ಬಂದನು. ಧರ್ಮಶಾಸ್ತ್ರದ ವಿಧಿಯನ್ನು ಪೂರೈಸಲು ಬಾಲಯೇಸುವನ್ನು  ತಂದೆತಾಯಿಗಳು ದೇವಾಲಯಕ್ಕೆ ತಂದಾಗ, ಸಿಮೆಯೋನನು ಮಗುವನ್ನುತನ್ನ ಕೈಗಳಲ್ಲಿ ಎತ್ತಿಕೊಂಡು ದೇವರನ್ನು ಹೀಗೆಂದು ಸ್ತುತಿಸಿದನು: "ನಿನ್ನ ಮಾತು ಸರ್ವೇಶ್ವರಾ, ನೆರವೇರಿತಿಂದು; ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನು, ನೀನಿತ್ತ ಉದ್ಧಾರಕನನು ನಾ ಕಂಡೆ ಕಣ್ಣಾರೆ, ಜನರೆಲ್ಲರ ಸಮ್ಮುಖದಲ್ಲಿ ನೀನೀತನನು ಪ್ರತ್ಯಕ್ಷ ಮಾಡಿರುವೆ. ಈತ ಅನ್ಯ ಜನರನ್ನು ಬೆಳಗಿಸುವ ಜ್ಯೋತಿ, ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ," ಮಗುವಿನ ವಿಷಯವಾಗಿ ಹೇಳಿದ ಮಾತುಗಳನ್ನು ಕೇಳಿ ತಂದೆತಾಯಿಗಳು ಆಶ್ಚರ್ಯಪಟ್ಟರು. ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, "ಇಗೋ, ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವ ಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು. ನಿನ್ನ ವಿಷಯದಲ್ಲಿ ಹೇಳುವುದಾದರೆ, ದುಃಖವೆಂಬ ಅಲಗೊಂದು ನಿನ್ನ ಅಂತರಂಗವನ್ನು ಸೀಳುವುದು." ಎಂದು ಹೇಳಿದನು. ಇದಲ್ಲದೆ ಅಲ್ಲಿ ಅಶೇರನ ವಂಶಕ್ಕೆ ಸೇರಿದ ಫನುವೇಲನ ಮಗಳಾದ ಅನ್ನಳೆಂಬ  ಪ್ರವಾದಿನಿಯಿದ್ದಳು. ಅವಳು ಮುದಿಪ್ರಾಯದವಳು. ಮದುವೆಯಾಗಿ ಏಳು ವರ್ಷ ಮಾತ್ರ ಗಂಡನೊಡನೆ ಬಾಳಿ ವಿಧವೆಯಾದವಳು. ಅವಳಿಗೆ ಸುಮಾರು ಎಂಭತ್ತನಾಲ್ಕು ವರ್ಷ ವಯಸ್ಸು. ಮಹಾ ದೇವಾಲಯವನ್ನು ಬಿಟ್ಟು ಅವಳು ಎಲ್ಲಿಗೂ  ಹೋಗುತ್ತಿರಲಿಲ್ಲ; ಹಗಲಿರುಳು ಉಪವಾಸ ಪ್ರಾರ್ಥನೆಗಳಿಂದ ದೇವಾರಾಧನೆಯಲ್ಲಿ ನಿರತಳಾಗಿದ್ದಳು. ಅವಳು ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿ, ಜೆರುಸಲೇಮಿನ ವಿಮೋಚನೆಯನ್ನು ಎದುರು ನೋಡುತ್ತಿದ್ದ ಅಲ್ಲಿಯವರಿಗೆಲ್ಲಾ ಶಿಶುವಿನ ವಿಷಯವಾಗಿ ಹೇಳತೊಡಗಿದಳು. ಸರ್ವೇಶ್ವರನ ಧರ್ಮಶಾಸ್ತ್ರಕ್ಕನುಸಾರ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಜೋಸೆಫ್ ಮತ್ತು ಮರಿಯಳು ಗಲಿಲೇಯ  ಪ್ರಾಂತ್ಯದಲ್ಲಿದ್ದ ತಮ್ಮ ಸ್ವಗ್ರಾಮವಾದ ನಜರೇತಿಗೆ ಹಿಂದಿರುಗಿದರು. ಬಾಲಕ ಯೇಸು ಬೆಳೆದಂತೆ ಶಕ್ತರೂ ಜ್ಞಾನ ಸಂಪೂರ್ಣರೂ ಆದರು. ಇದಲ್ಲದೆ ದೈವಾನುಗ್ರಹ ಅವರ ಮೇಲಿತ್ತು.

ಮನಸ್ಸಿಗೊಂದಿಷ್ಟು : "ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು", "ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು" ಎನ್ನುವ ಶಕ್ತಿಶಾಲಿ ಸಿಮೋನನ ಮಾತುಗಳು ನಮ್ಮನ್ನು ಎಚ್ಚರಿಸುತ್ತಿವೆ. ಕ್ರಿಸ್ತನಿಗೆ, ಅವರ ಮೌಲ್ಯಗಳಿಗೆ  ನಾವು ಹೇಗೆ ಸ್ಪಂದಿಸುತ್ತೇವೆ ಎನ್ನುವುದು ನಮ್ಮ ಆಧ್ಯಾತ್ಮಿಕ ಉನ್ನತಿ, ಅವನತಿಯನ್ನು ನಿರ್ಧರಿಸಬಲ್ಲದು. ಲೌಕಿಕತೆಯಲ್ಲಿ ಮುಳುಗುವ ನಮ್ಮ ಜೀವನ ವಿಧಾನ ಕ್ರಿಸ್ತನ ಮಾರ್ಗವನ್ನು ಒಪ್ಪದೆ ಪ್ರತಿಭಟಿಸಬಲ್ಲದು. ಕ್ರಿಸ್ತ ಮಾರ್ಗದಲ್ಲಿ ತಟಸ್ಥ ನಿಲುವಿಗೆ ಅವಕಾಶವಿಲ್ಲ. ಕ್ರಿಸ್ತ ಪರ ಅಥವಾ  ವಿರೋಧಿ ಎಂಬ ಎರಡೇ  ಆಯ್ಕೆ.

ಪ್ರಶ್ನೆ : ಕ್ರಿಸ್ತನ ಮೂಲಕ ನಾವು ಉನ್ನತಿಗೇರಲು ಸಿದ್ಧವಾಗಿದ್ದೇವೆಯೇ?

29.08.2026 - ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು

  ಸಂತ ಸ್ನಾನಿಕ ಯೊವಾನ್ನನ ಶಿರಚ್ಛೇದನ ಮೊದಲನೇ ವಾಚನ: ಯೆರೆಮಿಯ: 1: 17-19 ಆದುದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲ...