08.09.20 - “ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು ‘ಇಮ್ಮಾನುವೇಲ್’ ಎಂದು ಆತನಿಗೆ ಹೆಸರಿಡುವರು”

ಮೊದಲನೇ ವಾಚನ: ಮೀಕ 5:1-4

ಸಿಯೋನ್ ನಗರಿಯೇ, ನಿನ್ನ ಸೇನಾವ್ಯೂಹಗಳನ್ನು ಒಟ್ಟುಗೂಡಿಸು. ಇಗೋ, ಶತ್ರುಗಳು ನಮಗೆ ಮುತ್ತಿಗೆಹಾಕಿದ್ದಾರೆ. ಅವರು ಇಸ್ರಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು! ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು. ಇಂತಿರಲು ದಿನತುಂಬಿದವಳು ಹೆರುವವರೆಗೂ ಸರ್ವೇಶ್ವರ ತನ್ನ ಜನರನ್ನು ಶತ್ರುಗಳ ವಶಕ್ಕೆ ಬಿಟ್ಟುಬಿಡುವರು. ಅನಂತರ ಅಳಿದುಳಿದ ಸಹೋದರರು ಬಂದು ಇಸ್ರಯೇಲ್ ಜನರೊಂದಿಗೆ ಸೇರಿಕೊಳ್ಳುವರು. ಆತನು ಸರ್ವೇಶ್ವರನಿಂದ ಬರುವ ಶಕ್ತಿಯಿಂದಲೂ ಆ ಸ್ವಾಮಿ ದೇವರ ನಾಮದ ಪ್ರಭಾವದಿಂದಲೂ ತನ್ನ ಜನರನ್ನು ಪರಿಪಾಲಿಸುವನು. ಆ ಜನರು ಸುರಕ್ಷಿತವಾಗಿ ಬಾಳುವರು. ಆತನು ಜಗದ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.

ಕೀರ್ತನೆ: 13:6, 6

ಶ್ಲೋಕ: ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ

ಶುಭಸಂದೇಶ: ಮತ್ತಾಯ 1:1-16, 18-23


ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸುಕ್ರಿಸ್ತರ ವಂಶಾವಳಿ: ಅಬ್ರಹಾಮನಿಗೆ ಇಸಾಕನು, ಇಸಾಕನಿಗೆ ಯಕೋಬನು, ಯಕೋಬನಿಗೆ ಯೂದ ಹಾಗೂ ಆತನ ಸಹೋದರರು ಹುಟ್ಟಿದರು. ಯೂದನಿಗೆ ತಾಮರ ಎಂಬವಳಿಂದ, ಪೆರಸ್ ಹಾಗೂ ಜೆರಹನ್ ಹುಟ್ಟಿದರು. ಪೆರಸನಿಗೆ ಹೆಸ್ರೋನ್, ಹೆಸ್ರೋನನಿಗೆ ರಾಮ್, ರಾಮನಿಗೆ ಅಮ್ಮಿನದಾಬ್, ಅಮ್ಮಿನದಾಬನಿಗೆ ನಹಸ್ಸೋನ್, ನಹಸ್ಸೋನನಿಗೆ ಸಲ್ಮೋನ್, 5ಸಲ್ಮೋನನಿಗೆ ರಹಾಬ್ ಎಂಬವಳಿಂದ ಬೋವಜ್, ಬೋವಜನಿಗೆ ರೂತ್ ಎಂಬವಳಿಂದ ಓಬೇದ್, ಓಬೇದನಿಗೆ ಜೆಸ್ಸೆಯ, ಜೆಸ್ಸೆಯನಿಗೆ ದಾವೀದರಸನು ಹುಟ್ಟಿದರು. ದಾವೀದನಿಗೆ ಊರಿಯನ ಹೆಂಡತಿಯಿಂದ ಸೊಲೊಮೋನ್, ಸೊಲೊಮೋನನಿಗೆ ರೆಹಬ್ಬಾಮ, ರೆಹಬ್ಬಾಮನಿಗೆ ಅಬೀಯ, ಅಬೀಯನಿಗೆ ಆಸನ್ ಹುಟ್ಟಿದರು. ಆಸನನಿಗೆ ಯೋಸೆಫಾತ್, ಯೋಸೆಫಾತನಿಗೆ ಯೆಹೋರಾಮ್, ಯೆಹೋರಾಮನಿಗೆ ಉಜ್ಜೀಯ ಹುಟ್ಟಿದರು. ಉಜ್ಜೀಯನಿಗೆ ಯೋತಾಮ್, ಯೋತಾಮನಿಗೆ ಅಹಾಜ್, ಅಹಾಜನಿಗೆ ಹಿಜ್ಕೀಯನು ಹುಟ್ಟಿದರು. ಹಿಜ್ಕೀಯನಿಗೆ ಮನಸ್ಸೆ, ಮನಸ್ಸೆಗೆ ಆಮೋನ್,  ಆಮೋನನಿಗೆ ಯೋಷೀಯ ಹುಟ್ಟಿದರು. ಯೋಷೀಯನಿಗೆ ಯೆಕೊನ್ಯ ಮತ್ತು ಅವನ ಸಹೋದರರು ಹುಟ್ಟಿದರು. ಈ ಸಮಯದಲ್ಲೇ ಇಸ್ರಯೇಲರನ್ನು ಬಾಬಿಲೋನಿಗೆ ಸೆರೆ ಒಯ್ದದ್ದು. ಬಾಬಿಲೋನಿಗೆ ಸೆರೆಹೋದ ದಾಸ್ಯದಿನಗಳು ಮುಗಿದ ಮೇಲೆ ಯೆಕೊನ್ಯನಿಗೆ ಸಲಥಿಯೇಲ್, ಸಲಥಿಯೇಲನಿಗೆ ಜೆರುಬಾಬೆಲ್,  ಜೆರುಬಾಬೆಲನಿಗೆ ಅಬೀಹೂದ್, ಅಬೀಹೂದನಿಗೆ ಎಲ್ಯಕೀಮ್. ಎಲ್ಯಕೀಮನಿಗೆ ಅಜೋರ್ ಹುಟ್ಟಿದರು.  ಅಜೋರನಿಗೆ ಸದೋಕ್, ಸದೋಕನಿಗೆ ಅಖೀಮ್, ಅಖೀಮನಿಗೆ ಎಲಿಹೂದ್,  ಎಲಿಹೂದನಿಗೆ ಎಲಿಯಾಜರ್, ಎಲಿಯಾಜರನಿಗೆ ಮತ್ತಾನ್, ಮತ್ತಾನನಿಗೆ ಯಕೋಬ್ ಹುಟ್ಟಿದರು. ಯಕೋಬನಿಗೆ ಮರಿಯಳ ಪತಿಯಾದ ಜೋಸೆಫನು ಹುಟ್ಟಿದನು. ಈ ಮರಿಯಳಿಂದಲೇ “ಕ್ರಿಸ್ತ” ಎಂದು ಕರೆಯಲಾಗುವ ಯೇಸುಸ್ವಾಮಿ ಹುಟ್ಟಿದ್ದು; ಕ್ರಿಸ್ತಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭ ಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ. ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು.  ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, “ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ.  ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು. “ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು ‘ಇಮ್ಮಾನುವೇಲ್’ ಎಂದು ಆತನಿಗೆ ಹೆಸರಿಡುವರು” ಎಂಬುದಾಗಿ ಪ್ರವಾದಿಯ ಮುಖಾಂತರ ಸರ್ವೇಶ್ವರ ಹೇಳಿದ ಪ್ರವಚನ ನೆರವೇರುವಂತೆ ಇದೆಲ್ಲಾ ಸಂಭವಿಸಿತು.  “ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.

ಮರಿಯಮ್ಮನವರ ಗೀತೆಗಳು


                                            



 

07.09.20 - “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದ. ಕೈ ಸ್ವಸ್ಥವಾಯಿತು.

ಮೊದಲನೇ ವಾಚನ: 1 ಕೊರಿಂಥಿಯರಿಗೆ 5:1-8 

ಸಹೋದರರೇ,  ದುರ್ನಡತೆ ನಿಮ್ಮಲ್ಲಿದೆಯೆಂಬುದಾಗಿ ವರದಿ ಬಂದಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನಂತೆ. ಹೀಗಿರಲು, ನೀವು ಸೊಕ್ಕಿನಿಂದ ಮೆರೆಯಲು ಕಾರಣವಾದರೂ ಎಲ್ಲಿದೆ? ಬದಲಿಗೆ, ನೀವು ವ್ಯಸನಪಟ್ಟು ಅವನನ್ನು ನಿಮ್ಮ ಸಭಾಕೂಟದಿಂದ ಬಹಿಷ್ಕರಿಸಬೇಕಾಗಿತ್ತಲ್ಲವೆ? ನಾನು ಶಾರೀರಿಕವಾಗಿ ನಿಮ್ಮಿಂದ ದೂರವಿದ್ದರೂ ಆತ್ಮಿಕವಾಗಿ ನಿಮ್ಮ ಹತ್ತಿರವಿದ್ದೇನೆ. ನಿಮ್ಮ ಸಂಗಡವೇ ಇರುವವನಂತೆ ಅವನಿಗೆ ಏನುಮಾಡಬೇಕೆಂದು ಈಗಾಗಲೇ ತೀರ್ಮಾನಿಸಿದ್ದೇನೆ. ಅದೇನೆಂದರೆ: ನೀವು ಸಭೆಸೇರಿ, ಪ್ರಭು ಯೇಸುವಿನ ಶಕ್ತಿಯ ಆಧಾರದ ಮೇಲೆ ಅವನನ್ನು ಸೈತಾನನಿಗೆ ಒಪ್ಪಿಸಿಬಿಡಬೇಕು. ನಾನು ಆತ್ಮಿಕವಾಗಿ ನಿಮ್ಮ ಮಧ್ಯೆಯಿರುತ್ತೇನೆ. ಅವನ ದೇಹವು ದಂಡನೆಗೊಳಗಾದರೂ ಅವನ ಆತ್ಮ ಪ್ರಭು ಯೇಸುವಿನ ದಿನದಂದು ಉದ್ಧಾರವಾಗುವಂತೆ ಹೀಗೆ ಮಾಡಬೇಕು. ನೀವು ಜಂಬ ಕೊಚ್ಚಿಕೊಳ್ಳುವುದು ತರವಲ್ಲ. ಒಂದಿಷ್ಟು ಹುಳಿ, ಹಿಟ್ಟನ್ನೆಲ್ಲಾ ಹುದುಗೆಬ್ಬಿಸುತ್ತದೆಂಬುದನ್ನು ನೀವು ಚೆನ್ನಾಗಿ ಬಲ್ಲಿರಿ. ನೀವು ಹುಳಿಯಿಲ್ಲದ ಕಣಕವಾಗಿದ್ದೀರಿ. ಅಪ್ಪಟ ರೊಟ್ಟಿಯಾಗುವಂತೆ ಹುಳಿಯನ್ನು ತೆಗೆದುಹಾಕಿರಿ. ಏಕೆಂದರೆ, ಪಾಸ್ಕ ಯಜ್ಞದ ಕುರಿಮರಿಯಾದ ಕ್ರಿಸ್ತಯೇಸು ಬಲಿಯಾಗಿದ್ದಾರೆ. ಆದಕಾರಣ ನಾವು ದುಷ್ಟತನ, ಕೆಡುಕುತನವೆಂಬ ಹುಳಿಹಿಟ್ಟನ್ನು ವರ್ಜಿಸೋಣ. ಪರಿಶುದ್ಧತೆ ಮತ್ತು ಸತ್ಯತೆ ಎಂಬ ಹುಳಿಯಿಲ್ಲದ ಹೊಸರೊಟ್ಟಿಯನ್ನು ತಿಂದು ಪಾಸ್ಕಹಬ್ಬವನ್ನು ಆಚರಿಸೋಣ.

ಕೀರ್ತನೆ: 5:5-6, 7, 12

ಶ್ಲೋಕ: ಸತ್ಯಪಥದಲಿ ನಡೆಸೆನ್ನನು ದೇವಾ

ಶುಭಸಂದೇಶ: ಲೂಕ 6:6-11

ಒಂದು ಸಬ್ಬತ್ ದಿನ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿದ್ದರು. ಅಲ್ಲಿ ಬಲಗೈ ಬತ್ತಿಹೋಗಿದ್ದ ಒಬ್ಬಾತ ಇದ್ದನು. ಅವನನ್ನು ಸಬ್ಬತ್ದಿನದಲ್ಲಿ ಸ್ವಸ್ಥಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪು ಹೊರಿಸಬಹುದೆಂಬ ಉದ್ದೇಶದಿಂದ ಧರ್ಮಶಾಸ್ತ್ರಿಗಳು ಮತ್ತು ಫರಿಸಾಯರು ಹೊಂಚುಹಾಕಿ ನೋಡುತ್ತಿದ್ದರು. ಯೇಸು ಅವರ ಆಲೋಚನೆಗಳನ್ನರಿತು ಬತ್ತಿದ ಕೈ ಉಳ್ಳವನಿಗೆ, “ಬಂದು ಇಲ್ಲಿ ನಿಲ್ಲು,” ಎಂದರು. ಅವನು ಎದ್ದುಬಂದು ನಿಂತನು. ಆಗ ಯೇಸು ಅವರಿಗೆ, “ನಾನು ನಿಮಗೊಂದು ಪ್ರಶ್ನೆ ಹಾಕುತ್ತೇನೆ: ಸಬ್ಬತ್ತ್ ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ?” ಎಂದರು. ಅನಂತರ ಸುತ್ತಲೂ ಇದ್ದವರೆಲ್ಲರನ್ನು ದಿಟ್ಟಿಸಿ ನೋಡಿ ಬತ್ತಿದ ಕೈಯುಳ್ಳವನ ಕಡೆಗೆ ತಿರುಗಿ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದ. ಕೈ ಸ್ವಸ್ಥವಾಯಿತು. ಅವರಾದರೋ ಕ್ರೋಧಭರಿತರಾಗಿ, ಯೇಸುವಿಗೆ ಏನಾದರೂ ಮಾಡಬೇಕೆಂದು ತಮ್ಮತಮ್ಮೊಳಗೆ ಸಂಚುಮಾಡಿದರು.


ಸಂತ ಮರಿಯಮ್ಮನವರ ಗೀತೆಗಳು - ಚಿಗುರು ಬಳಗ 





06.09.20 - "ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.”

ಮೊದಲನೇ ವಾಚನ: ಯೆಜೆಕಿಯೇಲ 33:7-9

ಕರ್ತರು ನನಗೆ ಇಂತೆಂದರು: “ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರಿಗೆ ಕಾವಲುಗಾರನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ದೂತನಾಗಿ ಅವರನ್ನು ಎಚ್ಚರಪಡಿಸು. ನಾನು ದುಷ್ಟನಿಗೆ - ‘ದುಷ್ಟನೇ, ನೀನು ಸತ್ತೇಸಾಯುವೆ’ ಎಂದು ನುಡಿಯುವಾಗ ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಪಡಿಸದೆಹೋದರೆ ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ಮುಯ್ಯಿತೀರಿಸುವೆನು. ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಿಸಿದರೂ ಇವನು ಅದನ್ನು ಬಿಡದೆಹೋದರೆ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.

ಕೀರ್ತನೆ: 95:1-2, 6-7, 8-9

ಶ್ಲೋಕ: ಪ್ರಭುವಿನ ಕರೆಗೆ ಕಿವಿಗೊಟ್ಟರೆನಿತೊ ಒಳ್ಳಿತು ನೀವೀಂದೇ

ಎರಡನೇ ವಾಚನ: ರೋಮನರಿಗೆ 13:8-10

ಸಹೋದರರೇ, ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ವಿಧವಾದ ಋಣವೂ ನಿಮಗಿರಬಾರದು. ಏಕೆಂದರೆ ಪರರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನು ಪೂರ್ಣವಾಗಿ ನೆರವೇರಿಸಿದವನು. “ವ್ಯಭಿಚಾರ ಮಾಡಬೇಡ, ಕೊಲಬೇಡ, ಕಳಬೇಡ, ದುರಾಶೆ ಪಡಬೇಡ,” - ಈ ಮುಂತಾದ ಆಜ್ಞೆಗಳೆಲ್ಲವೂ “ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನೂ ಪ್ರೀತಿಸು,” ಎಂಬ ಒಂದೇ ಆಜ್ಞೆಯಲ್ಲಿ ಅಡಗಿವೆ.ಪ್ರೀತಿಯು ಪರರಿಗೆ ಕೇಡು ಬಗೆಯದು. ಆದಕಾರಣ ಪ್ರೀತಿಯೇ ಧರ್ಮಶಾಸ್ತ್ರದ ಪೂರೈಕೆ.

ಶುಭಸಂದೇಶ: ಮತ್ತಾಯ 18:15-20


ಯೇಸು ತಮ್ಮ ಶಿಷ್ಯರಿಗೆ: “ನಿನ್ನ ಸೋದರನು ನಿನಗೆ ಅಪರಾಧಮಾಡಿದರೆ, ನೀನು ಹೋಗಿ ನೀವಿಬ್ಬರೇ ಇರುವಾಗ, ಅವನ ತಪ್ಪನ್ನು ಮನಗಾಣಿಸು. ಅವನು ನಿನಗೆ ಕಿವಿಗೊಟ್ಟರೆ ಅವನ ಸೋದರತ್ವವನ್ನು ನೀನು ಮತ್ತೆ ಗಳಿಸಿಕೊಂಡಂತಾಗುವುದು. ಒಂದು ವೇಳೆ, ಅವನು ನಿನಗೆ ಕಿವಿಗೊಡದೆಹೋದರೆ ಒಬ್ಬಿಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು; ಹೀಗೆ ಇಬ್ಬರು ಅಥವಾ ಮೂವರು ಸಾಕ್ಷಿಗಳ ಸಮ್ಮುಖದಲ್ಲಿ ಪ್ರತಿಯೊಂದು ಮಾತೂ ಇತ್ಯರ್ಥವಾಗಲಿ. ಅವರಿಗೂ ಅವನು ಕಿವಿಗೊಡದೆಹೋದಲ್ಲಿ ಧರ್ಮಸಭೆಗೆ ತಿಳಿಸು. ಧರ್ಮಸಭೆಗೂ ಅವನು ಕಿವಿಗೊಡದೆಹೋದರೆ ಅವನನ್ನು ಧರ್ಮಭ್ರಷ್ಟನೆಂದು ಹಾಗೂ ಬಹಿಷ್ಕೃತನೆಂದು ಪರಿಗಣಿಸು. “ನೀವು ಇಹದಲ್ಲಿ ಏನನ್ನು ಬಂಧಿಸುತ್ತೀರೋ ಅದು ಪರದಲ್ಲೂ ಬಂಧಿಸಲಾಗುವುದು; ನೀವು ಇಹದಲ್ಲಿ ಏನನ್ನು ಬಿಚ್ಚುತ್ತೀರೋ ಅದು ಪರದಲ್ಲೂ ಬಿಚ್ಚಲಾಗುವುದು ಎಂದು ನಿಮಗೆ ಖಚಿತವಾಗಿ ಹೇಳುತ್ತೇನೆ.  “ಇನ್ನೂ ನಾನು ನಿಮಗೆ ಹೇಳುವುದು ಏನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದಾದರೊಂದು ವಿಷಯವಾಗಿ ಇಹಲೋಕದಲ್ಲಿ ಒಮ್ಮನಸ್ಸುಳ್ಳವರಾಗಿದ್ದರೆ, ಅದು ಸ್ವರ್ಗದಲ್ಲಿರುವ ನನ್ನ ತಂದೆಯಿಂದ ಅವರಿಗೆ ಕೈಗೂಡುತ್ತದೆ.  ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.” ಎಂದರು.

ಸಂತ ಮರಿಯಮ್ಮನವರ ಹಳೆಯ ಗೀತೆಗಳ ಗೀತಗುಚ್ಛ


05.09.20 - "ನರಪುತ್ರನು ಸಬ್ಬತ್ತಿಗೆ ಒಡೆಯನಾಗಿದ್ದಾನೆ,”

ಮೊದಲನೇ ವಾಚನ: 1 ಕೊರಿಂಥಿಯರಿಗೆ  4: 6-15

ಸಹೋದರರೇ, ನಿಮ್ಮ ಪ್ರಯೋಜನಕ್ಕಾಗಿ ಇದೆಲ್ಲವನ್ನು ನನಗೂ ಅಪೊಲೋಸನಿಗೂ ಅನ್ವಯಿಸಿ ಹೇಳಿದ್ದೇನೆ. ನೀವು ನಮ್ಮ ಆದರ್ಶವನ್ನು ಅನುಸರಿಸಬೇಕು. ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ವಿೂರಬಾರದು. ನಿಮ್ಮಲ್ಲಿ ಯಾರೂ ಒಬ್ಬನ ಪಕ್ಷವಹಿಸಿ ಜಂಬ ಕೊಚ್ಚಿಕೊಂಡು ಮತ್ತೊಬ್ಬನನ್ನು ಕಡೆಗಣಿಸಬಾರದು. ಇತರರಿಗಿಂತಲೂ ನಿನ್ನನ್ನು ಶ್ರೇಷ್ಠನನ್ನಾಗಿಸಿದವರು ಯಾರು? ದೇವರಿಂದ ಪಡೆಯದೆ ಇರುವುದು ನಿನ್ನಲ್ಲಿ ಯಾವುದಾದರೂ ಇದೆಯೆ? ಹೀಗೆ ಎಲ್ಲವನ್ನೂ ದೇವರಿಂದ ಪಡೆದ ಮೇಲೆ, ಪಡೆಯದವನಂತೆ ಜಂಬ ಕೊಚ್ಚಿಕೊಳ್ಳುವುದೇಕೆ? ಈಗಾಗಲೇ ನೀವು ಸಂತೃಪ್ತರಾಗಿಬಿಟ್ಟಿರೋ? ಇಷ್ಟಕ್ಕೇ ಶ್ರೀಮಂತರಾಗಿಬಿಟ್ಟಿರೋ? ನಮ್ಮನ್ನು ಬಿಟ್ಟು ನೀವು ಸಿಂಹಾಸನವೇರಿಬಿಟ್ಟಿರೋ? ನೀವು ನಿಜವಾಗಿಯೂ ರಾಜರಾಗಿದ್ದರೆ ಚೆನ್ನಾಗಿರುತ್ತಿತ್ತು! ಆಗ ನಾವೂ ನಿಮ್ಮ ಜೊತೆ ರಾಜ್ಯ ಆಳಬಹುದಿತ್ತು! ಬದಲಿಗೆ, ಪ್ರೇಷಿತರಾದ ನಮ್ಮನ್ನು ದೇವರು ಕಟ್ಟಕಡೆಯವರನ್ನಾಗಿಸಿದ್ದಾರೆಂದು ತೋರುತ್ತದೆ. ಎಲ್ಲರ ಮುಂದೆ ಮರಣದಂಡನೆಗೆ ಎಳೆದೊಯ್ಯಲಾಗುವವರಂತೆ ನಾವು ದೂತರಿಗೂ ಮಾನವರಿಗೂ ಇಡೀ ಜಗತ್ತಿಗೂ ಹಾಸ್ಯಾಸ್ಪದವಾದ ನೋಟವಾಗಿದ್ದೇವೆ. ಕ್ರಿಸ್ತಯೇಸುವಿನ ನಿಮಿತ್ತ ನಾವಂತೂ ಹುಚ್ಚರು, ನೀವಾದರೋ ಕ್ರಿಸ್ತಯೇಸುವಿನಲ್ಲಿ ಬುದ್ದಿವಂತರು; ನಾವು ಬಲಹೀನರು, ನೀವು ಬಲಾಢ್ಯರು; ನಾವು ಅವಮಾನಿತರು, ನೀವು ಸನ್ಮಾನಿತರು! ಈ ಗಳಿಗೆಯವರೆಗೂ ನಾವು ಹಸಿದು ಬಾಯಾರಿದವರು, ಬಟ್ಟೆಬರೆ ಇಲ್ಲದವರು, ಏಟುಪೆಟ್ಟು ತಿನ್ನುವವರು ಮತ್ತು ಮನೆಮಠವಿಲ್ಲದೆ ಅಲೆಯುವವರು ಆಗಿದ್ದೇವೆ. ಸ್ವಂತ ದುಡಿಮೆಯಿಂದ ಜೀವಿಸುತ್ತೇವೆ; ನಮ್ಮನ್ನು ಶಪಿಸುವವರನ್ನು ಆಶೀರ್ವದಿಸುತ್ತೇವೆ; ಹಿಂಸೆಗೊಳಗಾದಾಗ ಸಹಿಸಿಕೊಳ್ಳುತ್ತೇವೆ. ಅಪವಾದ ಹೊರಿಸಿದವರೊಡನೆ ವಿನಯದಿಂದ ವರ್ತಿಸುತ್ತೇವೆ; ಪ್ರಪಂಚದ ಪಾಲಿಗೆ ನಾವೀಗ ಕಸಕ್ಕಿಂತಲೂ ಕಡೆ; ವಿಶ್ವಕ್ಕೇ ಹೊಲಸು! ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಬರೆಯಲಿಲ್ಲ. ನಮ್ಮ ನೆಚ್ಚಿನ ಮಕ್ಕಳಾದ ನಿಮ್ಮನ್ನು ಎಚ್ಚರಿಸಲೆಂದು ಬರೆದೆನು. ನಿಮಗೆ ಕ್ರಿಸ್ತಯೇಸುವಿನಲ್ಲಿ ಸಾವಿರಾರು ಮಂದಿ ಶಿಕ್ಷಕರು ಇರಬಹುದು. ಆದರೆ ನಿಮಗೆ ನಾನೊಬ್ಬನೇ ತಂದೆ. ಶುಭಸಂದೇಶದ ಮೂಲಕ ನಾನೇ ನಿಮ್ಮನ್ನು ಕ್ರಿಸ್ತಯೇಸುವಿನಲ್ಲಿ ಪಡೆದ ತಂದೆ.

ಕೀರ್ತನೆ:  145:17-18, 19-20, 21

ಶ್ಲೋಕ: ಹತ್ತಿರ ಇಹನು ಪ್ರಭು ಕರೆಯುವಾವರೆಲ್ಲರಿಗೆ

ಶುಭಸಂದೇಶ: ಲೂಕ 6:1-5

ಒಂದು ಸಬ್ಬತ್ದಿನ ಯೇಸುಸ್ವಾಮಿ ಗೋದಿಯ ಹೊಲಗಳನ್ನು ಹಾದುಹೋಗುತ್ತಿದ್ದರು. ಅವರ ಶಿಷ್ಯರು ಕೆಲವು ತೆನೆಗಳನ್ನು ಕಿತ್ತು ಕೈಗಳಲ್ಲಿ ಹೊಸಕಿ ತಿನ್ನಲಾರಂಭಿಸಿದರು. ಅದನ್ನು ಕಂಡ ಫರಿಸಾಯರಲ್ಲಿ ಕೆಲವರು, “ಸಬ್ಬತ್ತಿನ ದಿನದಲ್ಲಿ ನಿಷಿದ್ಧವಾದುದನ್ನು ನೀವು ಮಾಡುವುದೇಕೆ?” ಎಂದು ಅವರನ್ನು ಆಕ್ಷೇಪಿಸಿದರು. ಅದಕ್ಕೆ ಯೇಸು, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಏನು ಮಾಡಿದರೆಂಬುದನ್ನು ನೀವು ಓದಿರಬೇಕಲ್ಲವೆ? ದಾವೀದನು ದೇವಮಂದಿರದೊಳಕ್ಕೆ ಹೋಗಿ ಯಾಜಕರ ಹೊರತು ಬೇರೆ ಯಾರೂ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತೆಗೆದುಕೊಂಡು ತಿಂದುದಲ್ಲದೆ ತನ್ನ ಸಂಗಡಿಗರಿಗೂ ಕೊಟ್ಟನು ಅಲ್ಲವೆ? ನರಪುತ್ರನು ಸಬ್ಬತ್ತಿಗೆ ಒಡೆಯನಾಗಿದ್ದಾನೆ,” ಎಂದು ಉತ್ತರಕೊಟ್ಟರು.



04.09.20 - “ಮದುವಣಿಗನು ಜೊತೆಯಲ್ಲಿರುವಾಗ ಮದುವೆಯ ಅತಿಥಿಗಳನ್ನು ಉಪವಾಸವಿರಿಸಲಾದೀತೆ?"

ಮೊದಲನೇ ವಾಚನ: 1 ಕೊರಿಂಥಿಯರಿಗೆ 4:1-5

ಸಹೋದರರೇ, ನಾವು ಕ್ರಿಸ್ತಯೇಸುವಿನ ದಾಸರೆಂದೂ ದೇವರ ಸತ್ಯಾರ್ಥಗಳ ನಂಬಿಗಸ್ಥ ನಿರ್ವಾಹಕರೆಂದೂ ಜನರು ನಮ್ಮನ್ನು ಪರಿಗಣಿಸಲಿ. ನಿರ್ವಾಹಕರು ಪ್ರಾಮಾಣಿಕರಾಗಿರಬೇಕಾದುದು ಅತ್ಯವಶ್ಯ. ನನ್ನ ವಿಷಯದಲ್ಲಿ ಹೇಳುವುದಾದರೆ, ನಿಮ್ಮಿಂದಾಗಲಿ, ಮಾನವ ನಿಯಮಿತ ನ್ಯಾಯಾಲಯದಿಂದಾಗಲಿ ನನ್ನ ವಿಚಾರಣೆಯಾಗುವುದರ ಬಗ್ಗೆ ನನಗೆ ಕಿಂಚಿತ್ತೂ ಚಿಂತೆಯಿಲ್ಲ. ನನಗೆ ನಾನೇ ನ್ಯಾಯತೀರ್ಪು ಮಾಡಿಕೊಳ್ಳುವುದೂ ಇಲ್ಲ. ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಾಕ್ಷಿಗೆ ತೋರುವುದಿಲ್ಲ. ಆದರೂ ನಾನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯನಿರ್ಣಯ ಮಾಡುವವರು ಪ್ರಭುವೇ. ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.

ಕೀರ್ತನೆ: 37:3-4, 5-6, 27-28, 39-40

ಶ್ಲೋಕ: ಸಜ್ಜನರ ಜೀವೋದ್ಧಾರ ಪ್ರಭುವಿನಿಂದ 

ಶುಭಸಂದೇಶ: ಲೂಕ 5:33-39


ಕೆಲವರು ಯೇಸುಸ್ವಾಮಿ ಬಳಿಗೆ ಬಂದು, “ಯೊವಾನ್ನನ ಶಿಷ್ಯರು ಪದೇಪದೇ ಉಪವಾಸವಿದ್ದು ಪ್ರಾರ್ಥನೆ ಮಾಡುತ್ತಾರೆ. ಅದರಂತೆಯೇ, ಫರಿಸಾಯರ ಶಿಷ್ಯರೂ ಮಾಡುತ್ತಾರೆ. ನಿನ್ನ ಶಿಷ್ಯರಾದರೋ ತಿಂದು ಕುಡಿಯುವುದರಲ್ಲಿಯೇ ಇದ್ದಾರೆ,” ಎಂದು ಕೆಲವರು ಮೂದಲಿಸಿದರು.  ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿರುವಾಗ ಮದುವೆಯ ಅತಿಥಿಗಳನ್ನು ಉಪವಾಸವಿರಿಸಲಾದೀತೆ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು. ಆ ದಿನಗಳು ಬಂದಾಗ ಅವರು ಉಪವಾಸಮಾಡುವರು,” ಎಂದು ಉತ್ತರಕೊಟ್ಟರು. ಮತ್ತೆ ಅವರಿಗೆ ಯೇಸು ಈ ಸಾಮತಿಯನ್ನು ಹೇಳಿದರು: “ಹಳೆಯ ಅಂಗಿಗೆ ತೇಪೆ ಹಾಕಲು ಹೊಸ ಅಂಗಿಯಿಂದ ತುಂಡನ್ನು ಯಾರೂ ಹರಿಯುವುದಿಲ್ಲ. ಹಾಗೆ ಮಾಡಿದ್ದೇ ಆದರೆ ಹೊಸದೂ ಹರುಕಲಾಗಿ, ಹಳೆಯದೂ ಹೊಸ ತೇಪೆಗೆ ಹೊಂದಿಕೆಯಾಗದೆ ಹೋಗುತ್ತದೆ.  ಅಂತೆಯೇ, ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ಯಾರೂ ತುಂಬಿಡುವುದಿಲ್ಲ. ತುಂಬಿ ಇಟ್ಟರೆ, ಹೊಸ ಮದ್ಯವು ಬುದ್ದಲಿಗಳನ್ನು ಬಿರಿಯುತ್ತದೆ; ಮದ್ಯ ಚೆಲ್ಲಿಹೋಗುತ್ತದೆ; ಬುದ್ದಲಿಗಳೂ ಹಾಳಾಗುತ್ತವೆ.  ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು.  ಹಳೆ ಮದ್ಯ ಕುಡಿದವನಿಗೆ ಹೊಸದು ರುಚಿಸುವುದಿಲ್ಲ. ಅವನು ಹಳೆಯದೇ ಶ್ರೇಷ್ಠವೆನ್ನುತ್ತಾನೆ,” ಎಂದರು.


03.09.20 - ಆ ಬೆಸ್ತರು ದೋಣಿಗಳನ್ನು ದಡಕ್ಕೆ ಸಾಗಿಸಿದ್ದೇ ಎಲ್ಲವನ್ನು ತ್ಯಜಿಸಿಬಿಟ್ಟು ಯೇಸುವನ್ನು ಹಿಂಬಾಲಿಸಿದರು

ಮೊದಲನೇ ವಾಚನ: 1 ಕೊರಿಂಥಿಯರಿಗೆ 3:18-23

ಸಹೋದರರೇ, ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ.  ಇಹಲೋಕದ ಜಾಣತನವು ದೇವರ ದೃಷ್ಟಿಯಲ್ಲಿ ಹುಚ್ಚುತನವೇ ಸರಿ. “ದೇವರು ಜ್ಞಾನಿಗಳನ್ನು ಅವರ ಜಾಲದಲ್ಲಿಯೇ ಸಿಕ್ಕಿಸುವರು” ಎಂದೂ  “ಜ್ಞಾನಿಗಳ ಯೋಜನೆಗಳು ನಿಷ್ಫಲವೆಂಬುದು ಪ್ರಭುವಿಗೆ ತಿಳಿದಿದೆ” ಎಂದೂ ಲಿಖಿತವಾಗಿದೆಯಲ್ಲವೆ?  ಆದ್ದರಿಂದ ಕೇವಲ ನರಮಾನವರನ್ನೇ ನೆಚ್ಚಿಕೊಂಡು ಯಾರೂ ಹೆಚ್ಚಳಪಡದಿರಲಿ.  ವಾಸ್ತವವಾಗಿ ಸಮಸ್ತವೂ ನಿಮ್ಮದೇ. ಪೌಲ, ಅಪೊಲೋಸ್, ಕೇಫ - ಇವರಾಗಲಿ; ಜಗತ್ತು, ಜೀವ, ಮರಣ - ಇವುಗಳಾಗಲಿ, ಅಥವಾ ವರ್ತಮಾನ, ಭವಿಷ್ಯತ್ಕಾಲಗಳಾಗಲಿ, ಇವೆಲ್ಲವೂ ನಿಮ್ಮವೇ.  ಆದರೆ ನೀವು ಕ್ರಿಸ್ತಯೇಸುವಿಗೆ ಸೇರಿದವರು; ಕ್ರಿಸ್ತಯೇಸು ದೇವರಿಗೆ ಸೇರಿದವರು.

ಕೀರ್ತನೆ: 24:1-2, 3-4, 5-6

ಶ್ಲೋಕ: ಜಗವೂ ಅದರ ಜೀವಜಂತುಗಳೆಲ್ಲವೂ ಪ್ರಭುವಿನದೇ

ಶುಭಸಂದೇಶ: ಲೂಕ: 5:1-11


ಒಮ್ಮೆ ಯೇಸುಸ್ವಾಮಿ ಗೆನೆಸರೇತ್ ಎಂಬ ಸರೋವರದ ತೀರದಲ್ಲಿ ನಿಂತಿದ್ದಾಗ, ಜನ ಸಮೂಹವು ದೇವರ ವಾಕ್ಯವನ್ನು ಕೇಳಲು ನೂಕುನುಗ್ಗಲಾಗಿ ಬಂದು ಅವರನ್ನು ಒತ್ತರಿಸುತ್ತಿತ್ತು. ಆಗ ದಡದ ಮೇಲಿದ್ದ ಎರಡು ದೋಣಿಗಳು ಯೇಸುವಿನ ಕಣ್ಣಿಗೆ ಬಿದ್ದವು. ಬೆಸ್ತರು ದೋಣಿಗಳನ್ನು ಅಲ್ಲಿಯೇ ಬಿಟ್ಟು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು. ಆ ದೋಣಿಗಳಲ್ಲಿ ಒಂದು ಸಿಮೋನನದು. ಯೇಸು ಅದನ್ನು ಹತ್ತಿ ದಡದಿಂದ ಸ್ವಲ್ಪ ದೂರ ತಳ್ಳಲು ಹೇಳಿ, ಅದರಲ್ಲೇ ಕುಳಿತುಕೊಂಡು ತಮ್ಮ ಬೋಧನೆಯನ್ನು ಮುಂದುವರಿಸಿದರು. ಬೋಧನೆ ಮುಗಿದದ್ದೇ ಸಿಮೋನನಿಗೆ, “ನೀರು ಆಳವಾಗಿರುವ ಸ್ಥಳಕ್ಕೆ ದೋಣಿಯನ್ನು ಹಾಯಿಸಿ, ಮೀನುಬೇಟೆಗೆ ನಿಮ್ಮ ಬಲೆಗಳನ್ನು ಹಾಕಿರಿ,” ಎಂದರು. ಅದಕ್ಕೆ ಸಿಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ದುಡಿದಿದ್ದೇವೆ; ಏನೂ ಸಿಗಲಿಲ್ಲ. ಆದರೂ ನಿಮ್ಮ ಮಾತಿಗೆ ಬೆಲೆ ಕೊಟ್ಟು ಬಲೆಗಳನ್ನು ಹಾಕುತ್ತೇವೆ,” ಎಂದನು. ಬಲೆಗಳನ್ನು ಹಾಕಿದ್ದೇ ಮೀನುಗಳು ರಾಶಿರಾಶಿಯಾಗಿ ಸಿಕ್ಕಿಕೊಂಡವು; ಬಲೆಗಳು ಹರಿದುಹೋಗುವುದರಲ್ಲಿದ್ದವು. ಆದುದರಿಂದ ಬೇರೆ ದೋಣಿಯಲ್ಲಿದ್ದ ತಮ್ಮ ಸಂಗಡಿಗರಿಗೆ ಸನ್ನೆಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಸೇರಿ ಮೀನುಗಳನ್ನು ತುಂಬಿಕೊಳ್ಳಲು, ದೋಣಿಗಳೆರಡೂ ಮುಳುಗಲು ಆರಂಭಿಸಿದವು. ಇದನ್ನು ಕಂಡ ಸಿಮೋನ್ ಪೇತ್ರನು ಯೇಸುವಿನ ಕಾಲಿಗೆ ಬಿದ್ದು, “ಸ್ವಾಮೀ, ನಾನು ಪಾಪಾತ್ಮ; ನನ್ನಿಂದ ದೂರವಿರಿ!” ಎಂದನು. ಹಿಡಿದ ಮೀನಿನ ರಾಶಿಯನ್ನು ಕಂಡು ಅವನ ಸಂಗಡಿಗರೆಲ್ಲರೂ ನಿಬ್ಬೆರಗಾಗಿ ಹೋಗಿದ್ದರು.  ಸಿಮೋನನ ಪಾಲುಗಾರರಾದ ಜೆಬೆದಾಯನ ಮಕ್ಕಳು - ಯಕೋಬ ಮತ್ತು ಯೊವಾನ್ನರು - ಹಾಗೆಯೇ ಬೆರಗಾಗಿದ್ದರು. ಆಗ ಯೇಸು ಸಿಮೋನನಿಗೆ, “ಹೆದರಬೇಡ, ಇಂದಿನಿಂದ ನೀನು ಮೀನು ಹಿಡಿಯುವ ಬದಲು ಮನುಷ್ಯರನ್ನೇ ಹಿಡಿಯುವವನು ಆಗುವೆ,” ಎಂದರು.  ಆ ಬೆಸ್ತರು ದೋಣಿಗಳನ್ನು ದಡಕ್ಕೆ ಸಾಗಿಸಿದ್ದೇ ಎಲ್ಲವನ್ನು ತ್ಯಜಿಸಿಬಿಟ್ಟು ಯೇಸುವನ್ನು ಹಿಂಬಾಲಿಸಿದರು.



02.09.20 - “ನೀವು ದೇವರ ಪುತ್ರ”

ಮೊದಲನೇ ವಾಚನ: ೧ ಕೊರಿಂಥಿಯರಿಗೆ 3:1-9

ಪ್ರಿಯ ಸಹೋದರರೇ, ದೇವರ ಆತ್ಮವನ್ನು ಪಡೆದವರೊಡನೆ ಮಾತನಾಡಿದಂತೆ ನಿಮ್ಮೊಡನೆ ನಾವು ಮಾತನಾಡಲಿಲ್ಲ. ಲೌಕಿಕರು ನೀವು; ಕ್ರಿಸ್ತಯೇಸುವಿನಲ್ಲಿ ಹಸುಗೂಸುಗಳು ನೀವು ಎಂದು ಭಾವಿಸಿ ನಿಮ್ಮೊಡನೆ ಮಾತನಾಡಬೇಕಾಯಿತು.  ನಾನು ನಿಮಗೆ ಹಾಲೂಡಿಸಿದೆನು; ಗಟ್ಟಿ ಆಹಾರವನ್ನು ಕೊಡಲಿಲ್ಲ. ಏಕೆಂದರೆ, ಅದನ್ನು ಜೀರ್ಣಿಸಿಕೊಳ್ಳಲು ನಿಮಗೆ ಶಕ್ತಿ ಇರಲಿಲ್ಲ. ಇಂದಿಗೂ ನೀವು ಶಕ್ತರಲ್ಲ. ನೀವು ಇನ್ನೂ ಲೌಕಿಕರಂತೆ ಬಾಳುತ್ತಿದ್ದೀರಿ. ನಿಮ್ಮ ನಡುವೆ ದ್ವೇಷ-ಅಸೂಯೆ, ವಾದ-ವಿವಾದಗಳು ಪ್ರಬಲವಾಗಿದ್ದು ನೀವಿನ್ನೂ ಪ್ರಾಣಿಗಳಂತೆ, ಸಾಧಾರಣ ಮನುಷ್ಯರಂತೆ ವರ್ತಿಸುತ್ತಿದ್ದೀರಲ್ಲವೆ? ಒಬ್ಬನು, ನಾನು ಪೌಲನ ಕಡೆಯವನು; ಇನ್ನೊಬ್ಬನು, ನಾನು ಅಪೊಲೋಸನ ಕಡೆಯವನು, ಎಂದು ನಿಮ್ಮೊಳಗೆ ಕಿತ್ತಾಡುವ ನೀವು ಕೇವಲ ನರಪ್ರಾಣಿಗಳಲ್ಲದೆ ಮತ್ತೇನು? ಅಪೊಲೋಸನು ಯಾರು? ಪೌಲನು ಯಾರು? ನಿಮ್ಮನ್ನು ವಿಶ್ವಾಸಕ್ಕೆ ಕರೆತಂದ ದಾಸರು ನಾವಲ್ಲವೇ? ನಮ್ಮಲ್ಲಿ ಪ್ರತಿಯೊಬ್ಬನು ಪ್ರಭು ನಿಯಮಿಸುವ ಕಾರ್ಯವನ್ನು ನಿರ್ವಹಿಸುತ್ತೇವೆ. ನಾನು ಸಸಿಯನ್ನು ನೆಟ್ಟೆನು; ಅಪೊಲೋಸನು ನೀರೆರೆದನು; ಆದರೆ ಅದನ್ನು ಬೆಳೆಸಿದವರು ದೇವರು. ಆದ್ದರಿಂದ ನೆಡುವವನಾಗಲಿ, ನೀರೆರೆಯುವವನಾಗಲಿ ಪ್ರಮುಖನಲ್ಲ; ಬೆಳವಣಿಗೆ ನೀಡುವ ದೇವರೇ ದೊಡ್ಡವರು. ನೆಡುವವನೂ ನೀರೆರೆಯುವವನೂ ಇಬ್ಬರೂ ಅಗತ್ಯವಾಗಿ ಬೇಕಾದವರೇ. ಅವನವನ ದುಡಿಮೆಗೆ ತಕ್ಕ ಹಾಗೆ ಪ್ರತಿಯೊಬ್ಬನೂ ಸಂಭಾವನೆ ಪಡೆಯುತ್ತಾನೆ. ನಾವು ದೇವರ ಸಹಕಾರ್ಮಿಕರು. ನೀವು ದೇವರೆ ಸಾಗುವಳಿಮಾಡುವ ಹೊಲ; ಅವರೆ ನಿರ್ಮಿಸುತ್ತಿರುವ ಮಂದಿರ.

ಕೀರ್ತನೆ: 33:12-13, 14-15, 20-21

ಶ್ಲೋಕ: ಸ್ವಜನರಾಗಿ ಪ್ರಭು ಆಯ್ದುಕೊಂಡ ಜನತೆ ಧನ್ಯ

ಶುಭಸಂದೇಶ: ಲೂಕ 4:38-44

ಪ್ರಾರ್ಥನಾಮಂದಿರದಿಂದ ಹೊರಟ ಯೇಸುಸ್ವಾಮಿ ಸಿಮೋನನ ಮನೆಗೆ ಬಂದರು. ಆ ಸಿಮೋನನ ಅತ್ತೆ ವಿಷಮಜ್ವರದಿಂದ ನರಳುತ್ತಿದ್ದಳು. ಅಲ್ಲಿದ್ದವರು ಅವಳ ಪರವಾಗಿ ಯೇಸುವಿನಲ್ಲಿ ಮೊರೆಯಿಟ್ಟರು. ಯೇಸು ಆಕೆಯ ಬಳಿ ನಿಂತು, ಬಾಗಿ, ಜ್ವರಕ್ಕೆ ಬಿಟ್ಟುಹೋಗೆಂದು ಆಜ್ಞಾಪಿಸಿದರು; ಅದು ಬಿಟ್ಟುಹೋಯಿತು. ಆ ಕ್ಷಣವೇ ಆಕೆ ಎದ್ದು ಅವರೆಲ್ಲರನ್ನು ಸತ್ಕರಿಸಿದಳು. ಸಂಜೆಯಾಗುತ್ತಿದ್ದಂತೆ ಜನರು ತಮ್ಮ ಮನೆಯಲ್ಲಿ ವಿಧವಿಧವಾದ ಕಾಯಿಲೆಯಿಂದ ನರಳುತ್ತಿದ್ದವರನ್ನೆಲ್ಲಾ ಯೇಸುಸ್ವಾಮಿಯ ಬಳಿಗೆ ಕರೆತಂದರು. ಯೇಸು ಪ್ರತಿಯೊಬ್ಬನ ಮೇಲೆ ತಮ್ಮ ಕೈಯಿಟ್ಟು ಗುಣಪಡಿಸಿದರು.  ಅನೇಕರ ಮೈಮೇಲಿದ್ದ ದೆವ್ವಗಳು ಸಹ, “ನೀವು ದೇವರ ಪುತ್ರ,” ಎಂದು ಬೊಬ್ಬೆಹಾಕುತ್ತಾ ಬಿಟ್ಟುಹೋದುವು. ಇವರೇ ‘ಕ್ರಿಸ್ತ’ ಎಂದು ಅವುಗಳು ತಿಳಿದಿದ್ದರಿಂದ ಯೇಸು ಅವುಗಳನ್ನು ಗದರಿಸಿ ಮಾತೆತ್ತಲು ಬಿಡಲಿಲ್ಲ. ಬೆಳಗಾಗುತ್ತಲೇ, ಯೇಸುಸ್ವಾಮಿ ಅಲ್ಲಿಂದ ಹೊರಟು ನಿರ್ಜನ ಸ್ಥಳಕ್ಕೆ ಹೋದರು. ಜನಸಮೂಹವು ಅವರನ್ನು ಹುಡುಕಿಕೊಂಡು ಅಲ್ಲಿಗೂ ಬಂದಿತು; ತಮ್ಮನ್ನು ಬಿಟ್ಟುಹೋಗಬಾರದೆಂದು ಜನರು ತಡೆಗಟ್ಟಲು ಯತ್ನಿಸಿದರು.  ಅವರಿಗೆ ಯೇಸು, “ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಬೇರೆ ಬೇರೆ ಊರುಗಳಿಗೂ ನಾನು ಬೋಧಿಸಬೇಕಾಗಿದೆ. ನನ್ನನ್ನು ಕಳುಹಿಸಿರುವುದು ಅದಕ್ಕಾಗಿಯೇ,” ಎಂದರು.  ಬಳಿಕ ಜುದೇಯ ಪ್ರಾಂತ್ಯದ ಪ್ರಾರ್ಥನಾಮಂದಿರಗಳಲ್ಲಿ ಯೇಸು ಬೋಧಿಸುತ್ತಿದ್ದರು.



16.10.2026 - IIಶುಕ್ರವಾರ IIನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿ

  ಮೊದಲನೆಯ ವಾಚನ: ರೋಮನರಿಗೆ 4:1-8 ಸಹೋದರರೇ, ವಂಶಾನುಕ್ರಮವಾಗಿ ನಮ್ಮ ಮೂಲಪಿತನಾದ ಅಬ್ರಹಾಮನ ಅನುಭವವನ್ನು ಕುರಿತು ಏನು ಹೇಳೋಣ? ಆತನು ತನ್ನ ಸತ್ಕಾರ್ಯಗಳಿಂದ ದೇವರೊಡನೆ...