ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

08.11.2020 - "ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು"

ಮೊದಲನೇ ವಾಚನ: ಸುಜ್ಞಾನ 6:12-16

ಸುಜ್ಞಾನವೆಂಬಾಕೆ ತೇಜೋ ಪುಂಜಳಾಗಿ ಇರುವಳು, ಅವಳ ಕಾಂತಿ ಕುಂದದು ಪ್ರೀತಿಸುವವರಿಗೆ ಸಹಜವಾಗಿ ಗೋಚರ ಆಗುವಳು ಅರಸುವವರಿಗೆ ಸಿಕ್ಕುವಳು ತನ್ನನ್ನು ತಿಳಿಯ ಲಪೇಕ್ಷಿಸುವವರ ಹತ್ತಿರಕ್ಕೆ ತಾನೇ ಬಂದು ತಿಳಿಯಪಡಿಸಿ ಕೊಳ್ಳುತ್ತಾಳೆ ಅವಳನ್ನು ಹುಡುಕುಲು ನಸುಕಿನಲೇ ಏಳುವ ಪರಿ ಶ್ರಮ ಬೇಡ ಕಾರಣ ತನ್ನ ಬಾಗಿಲಲೇ ಅವಳು ಕುಳಿತಿರುವುದನ್ನೆ ಕಾಣುವನಾತ ಅವಳ ಮೇಲೆ ನಿಗವಿಟ್ಟಿರುವವನು ಬುದ್ದಿ ಸಂಪನ್ನನಾಗುವನು ಅವಳನ್ನೇ ಕಾಯುತ್ತಿರುವನು ಚಿಂತೆಯಿಂದ ಬೇಗ ಮುಕ್ತನಾಗುವನು ಸುಜ್ಞಾನ ತನಗೆ ಯೋಗ್ಯರಾದವರನ್ನು ಅರಸುತ್ತ ಸಂಚರಿಸುತ್ತಾಳೆ ಹಾದಿಯಲ್ಲಿ ಅವರಿಗೆ ಪ್ರಸನ್ನಳಾಗಿ ಕಾಣಿಸುತ್ತಾಳೆ ಅವರ ಪ್ರತಿಯೊಂದು ಆಲೋಚನೆಯಲ್ಲೂ ಅವರೊಂದಿಗೆ ಇರುತ್ತಾಳೆ.

ಕೀರ್ತನೆ: 63:2, 3-4, 5-6, 7-8
ಶ್ಲೋಕ: ದೇವಾ, ನಿಯೆನ್ನ ದೇವಾ, ನಿನಗಾಗಿ ನಾ ಕಾದಿರುವೆ. 

ಎರಡನೇ ವಾಚನ: 1 ಥೆಸೆಲೋನಿಯರಿಗೆ 4:13-17

ಸಹೋದರರೇ, ಮೃತರ ಮುಂದಿನ ಸ್ಥಿತಿಗತಿಯ ವಿಷಯವಾಗಿ ನೀವು ತಿಳಿದಿರಬೇಕು ಎಂಬುದೇ ನಮ್ಮ ಬಯಕೆ. ಏಕೆಂದರೆ, ನಂಬಿಕೆ ನಿರೀಕ್ಷೆಯಿಲ್ಲದ ಇತರರಂತೆ ಮೃತರಿಗಾಗಿ ನೀವು ದುಃಖಿಸಬಾರದು. ಯೇಸು ಸತ್ತು ಪುನರುತ್ಥಾನ ಹೊಂದಿದರೆಂದು ನಾವು ವಿಶ್ವಾಸಿಸುತ್ತೇವೆ ಅಲ್ಲವೇ? ಹಾಗೆಯೇ, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟು ಮರಣಹೊಂದಿದವರನ್ನು ದೇವರು ಯೇಸುಕ್ರಿಸ್ತರೊಡನೆ ಮರಳಿ ಕರೆದುಕೊಳ್ಳುತ್ತಾರೆ. ಪ್ರಭುವಿನ ವಾಕ್ಯದ ಆಧಾರದ ಮೇಲೆ ನಾವು ನಿಮಗೆ ಹೇಳುತ್ತೇವೆ: ಪ್ರಭು ಪುನರಾಗಮಿಸುವಾಗ, ಇನ್ನೂ ಬದುಕಿರುವ ನಾವು ಮೃತರಾಗಿರುವ ಇತರರಿಗಿಂತಲೂ ಮುಂದಿನವರಾಗುವುದಿಲ್ಲ. ಆಜ್ಞಾಘೋಷವಾದಾಗ, ಪ್ರಧಾನ ದೂತನ ಧ್ವನಿಯು ಕೇಳಿಬಂದಾಗ, ದೇವರ ತುತೂರಿ ನಾದಗೈದಾಗ, ಪ್ರಭುವೇ ಸ್ವರ್ಗದಿಂದ ಇಳಿದುಬರುತ್ತಾರೆ. ಆಗ, ಕ್ರಿಸ್ತಸ್ಥರಾಗಿ ಮೃತರಾದವರು ಮೊದಲು ಎದ್ದುಬರುತ್ತಾರೆ. ಆಮೇಲೆ, ಇನ್ನೂ ಬದುಕಿರುವ ನಾವು ಎದ್ದುಬಂದವರೊಡನೆ ಆಕಾಶಮಂಡಲದಲ್ಲಿ ಪ್ರಭುವನ್ನು ಎದುರುಗೊಳ್ಳಲು ಮೇಘಾರೂಢರಾಗಿ ಮೇಲಕ್ಕೆ ಒಯ್ಯಲ್ಪಡುತ್ತೇವೆ. ಹೀಗೆ ಸರ್ವದಾ ನಾವು ಪ್ರಭುವಿನೊಂದಿಗೆ ಇರುತ್ತೇವೆ. 

ಶುಭಸಂದೇಶ:, ಮತ್ತಾಯ 25:1-13


ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: “ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಹೇಗಿರುವುದು ಎನ್ನುವುದಕ್ಕೆ ಈ ಸಾಮತಿಯನ್ನು ಕೊಡಬಹುದು: ಹತ್ತು ಮಂದಿ ಕನ್ಯೆಯರು ದೀಪಾರತಿ ಹಿಡಿದು ಮದುವಣಿಗನನ್ನು ಎದುರುಗೊಳ್ಳಲು ಹೋದರು. ಅವರಲ್ಲಿ ಐವರು ವಿವೇಕಿಗಳು, ಐವರು ಅವಿವೇಕಿಗಳು. ಅವಿವೇಕಿಗಳು ದೀಪಗಳನ್ನು ತೆಗೆದುಕೊಂಡರೇ ಹೊರತು ಜೊತೆಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. ವಿವೇಕಿಗಳಾದರೋ ದೀಪಗಳ ಜೊತೆಗೆ ಬುಡ್ಡಿಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. ಮದುವಣಿಗ ಬರುವುದು ತಡವಾಯಿತು. ಅವರೆಲ್ಲರೂ ತೂಕಡಿಸುತ್ತಾ ಹಾಗೇ ನಿದ್ರೆಹೋದರು. “ನಡುರಾತ್ರಿಯ ವೇಳೆ. ‘ಇಗೋ, ಮದುವಣಿಗ ಬರುತ್ತಿದ್ದಾನೆ; ಬನ್ನಿ, ಆತನನ್ನು ಎದುರುಗೊಳ್ಳಿ,’ ಎಂಬ ಕೂಗು ಕೇಳಿಸಿತು. ಕನ್ಯೆಯರೆಲ್ಲರೂ ಎದ್ದರು. ತಮ್ಮತಮ್ಮ ದೀಪದ ಬತ್ತಿಯನ್ನು ಸರಿಮಾಡಿದರು. ಅವಿವೇಕಿಗಳು, ‘ನಮ್ಮ ದೀಪಗಳು ಆರಿಹೋಗುತ್ತಾ ಇವೆ; ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿ,’ ಎಂದು ವಿವೇಕಿಗಳನ್ನು ಕೇಳಿಕೊಂಡರು. 9ಅದಕ್ಕೆ ಅವರು, ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆಹೋದೀತು, ನೀವು ಅಂಗಡಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು,’ ಎಂದರು. ಅಂತೆಯೇ ಅವರು ಎಣ್ಣೆಯನ್ನು ಕೊಂಡುಕೊಳ್ಳಲು ಹೋದಾಗ ಮದುವಣಿಗನು ಬಂದೇಬಿಟ್ಟನು. ಸಿದ್ಧರಾಗಿದ್ದವರು ಅವನ ಸಂಗಡ ವಿವಾಹ ಮಹೋತ್ಸವಕ್ಕೆ ಹೋದರು. ಕಲ್ಯಾಣಮಂಟಪದ ಬಾಗಿಲುಗಳನ್ನು ಮುಚ್ಚಲಾಯಿತು. ಉಳಿದ ಕನ್ಯೆಯರು ಅನಂತರ ಬಂದರು. ‘ಸ್ವಾಮೀ, ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ಕೂಗಿಕೊಂಡರು. ಅದಕ್ಕೆ ಉತ್ತರವಾಗಿ ಆ ಮದುವಣಿಗ, ‘ಅದಾಗದು, ನೀವು ಯಾರೋ ನನಗೆ ಗೊತ್ತಿಲ್ಲ,’ ಎಂದುಬಿಟ್ಟ. ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು.

07.11.20 - “ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾಗದು;

 ಮೊದಲನೇ ವಾಚನ: ಫಿಲಿಪ್ಪಿಯರಿಗೆ 4:10-19

ಸಹೋದರರೇ, ನನ್ನ ಬಗ್ಗೆ ನಿಮಗಿರುವ ಮಮತೆಯು ಇಷ್ಟು ದಿನಗಳಾದ ಮೇಲೆ ಪುನಃ ಅರಳಿದ್ದಕ್ಕೆ ಪ್ರಭುವಿನಲ್ಲಿ ನಾನು ಬಹಳ ಸಂತೋಷಪಡುತ್ತೇನೆ. ಇಂಥ ಮಮತೆ ನಿಮಗೆ ಮೊದಲಿನಿಂದ ಇತ್ತಾದರೂ ಅದನ್ನು ವ್ಯಕ್ತಪಡಿಲು ನಿಮಗೆ ಸೂಕ್ತ ಸಂದರ್ಭ ಒದಗಿರಲಿಲ್ಲ. ನಾನು ಯಾವುದೋ ಕೊರತೆಯಲ್ಲಿರುವೆನೆಂದು ಸೂಚಿಸಲು ಇದನ್ನು ಹೇಳುತ್ತಿಲ್ಲ. ನಾನು ಯಾವ ಸ್ಥಿತಿಯಲ್ಲಿದ್ದರೂ ತೃಪ್ತಿಯಿಂದಿರಲು ಕಲಿತುಕೊಂಡಿದ್ದೇನೆ. ಬಡತನ ಇರಲಿ, ಸಿರಿತನವಿರಲಿ, ಕೊರತೆಯಿರಲಿ, ಸಮೃದ್ಧಿ ಇರಲಿ, ಹಸಿದಿರಲಿ, ಹೊಟ್ಟೆ ತುಂಬಿರಲಿ - ಯಾವ ಸ್ಥಿತಿಯಲ್ಲಿದ್ದರೂ, ಎಲ್ಲಾ ವೇಳೆಯಲ್ಲಿಯೂ ತೃಪ್ತನಾಗಿರುವ ರಹಸ್ಯವನ್ನು ತಿಳಿದಿದ್ದೇನೆ. ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ. ಆದರೂ ನನ್ನ ಸಂಕಷ್ಟಗಳಲ್ಲಿ ಸಹಾಯ ಮಾಡಿದುದು ನಿಮ್ಮ ಸೌಜನ್ಯವೇ ಸರಿ. ಫಿಲಿಪ್ಪಿಯ ಸಹೋದರರೇ, ನಾನು ಶುಭಸಂದೇಶವನ್ನು ಸಾರಲು ಹೊರಟ ಪ್ರಾರಂಭದ ದಿನಗಳಲ್ಲಿ ಮಕೆದೋನಿಯವನ್ನು ಬಿಟ್ಟುಹೋದಾಗ ನೀವಲ್ಲದೆ ಬೇರೆ ಯಾವ ಸಭೆಯೂ ನನ್ನ ಆಯ-ವ್ಯಯಗಳಲ್ಲಿ ನೆರವಾಗಿರಲಿಲ್ಲ. ಇದು ನಿಮಗೆ ತಿಳಿದ ವಿಷಯ. ನಾನು ಥೆಸಲೋನಿಕದಲ್ಲಿದ್ದಾಗಲೂ ನನ್ನ ಕೊರತೆಯನ್ನು ನೀಗಿಸಲು ಒಂದೆರಡು ಬಾರಿ ಧನಸಹಾಯವನ್ನು ಕಳುಹಿಸಿದಿರಿ. ನಿಮ್ಮಿಂದ ಸಹಾಯ ಪಡೆಯಬೇಕೆಂಬುದು ನನ್ನ ಉದ್ದೇಶವಲ್ಲ. ಆದರೆ ಈ ಸಹಾಯದಿಂದ ನಿಮಗೆ ಮುಂದೆ ದೊರಕುವ ಪ್ರತಿಫಲವು ಸಮೃದ್ಧಿಯಾಗಲೆಂದೇ ನನ್ನ ಇಚ್ಛೆ. ನೀವು ಕಳುಹಿಸಿಕೊಟ್ಟಿದ್ದೆಲ್ಲವೂ ನನಗೆ ಸಂದಾಯವಾಗಿದೆ. ಈಗ ಅಗತ್ಯಕ್ಕಿಂತಲೂ ಅಧಿಕವಾಗಿದೆ, ಯಥೇಚ್ಛವಾಗಿದೆ. ಎಪಫ್ರೋದಿತನ ಮೂಲಕ ನೀವು ಕಳುಹಿಸಿದ್ದೆಲ್ಲವೂ ನನಗೆ ತಲುಪಿದೆ. ನಿಮ್ಮ ಕೊಡುಗೆ ಸುಗಂಧ ಕಾಣಿಕೆಯಾಗಿದೆ, ದೇವರಿಗೆ ಮೆಚ್ಚಿಗೆಯಾದ ಇಷ್ಟಾರ್ಥ ಬಲಿಯಾಗಿದೆ. ನನ್ನ ದೇವರು ತಮ್ಮ ಮಹದೈಶ್ವರ್ಯದಿಂದ ನಿಮ್ಮ ಅಗತ್ಯಗಳನ್ನೆಲ್ಲಾ ಕ್ರಿಸ್ತಯೇಸುವಿನ ಮುಖಾಂತರ ಪೂರೈಸುವರು. ನಮ್ಮ ತಂದೆಯಾದ ದೇವರಿಗೆ ನಿರಂತವೂ ಮಹಿಮೆ ಸಲ್ಲಲಿ!

ಕೀರ್ತನೆ: 112:1-2, 5-6, 8, 9

ಶ್ಲೋಕ: ಪ್ರಭುವಿನಲಿ ಭಯಭಕ್ತಿಯುಳ್ಳವನು ಧನ್ಯನು 

ಶುಭಸಂದೇಶ: ಲೂಕ 16:9-15

ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ನಾನು ಹೇಳುವುದನ್ನು ಗಮನಿಸಿರಿ; ಲೌಕಿಕ ಆಸ್ತಿಪಾಸ್ತಿಯಿಂದ ಗೆಳೆಯರನ್ನು ಗಳಿಸಿಕೊಳ್ಳಿರಿ. ಅದು ವ್ಯಯವಾಗಿ ಹೋದಾಗ ನಿಮ್ಮನ್ನು ಅಮರ ನಿವಾಸಕ್ಕೆ ಸ್ವಾಗತಿಸಲಾಗುವುದು. ಸಣ್ಣ ವಿಷಯಗಳಲ್ಲಿ ಪ್ರಾಮಾಣಿಕನಾಗಿ ನಡೆದುಕೊಳ್ಳುವವನು ದೊಡ್ಡ ವಿಷಯಗಳಲ್ಲೂ ಪ್ರಾಮಾಣಿಕನಾಗಿ ನಡೆದುಕೊಳ್ಳುತ್ತಾನೆ. ಸಣ್ಣ ವಿಷಯಗಳಲ್ಲಿ ದ್ರೋಹ ಮಾಡುವವನು ದೊಡ್ಡ ವಿಷಯಗಳಲ್ಲೂ ದ್ರೋಹಮಾಡುತ್ತಾನೆ. ಲೌಕಿಕ ಆಸ್ತಿಪಾಸ್ತಿಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆಹೋದರೆ, ನಿಮ್ಮನ್ನು ನಂಬಿ ನೈಜ ಸಂಪತ್ತನ್ನು ನಿಮ್ಮ ವಶಕ್ಕೆ ಕೊಡುವವರಾರು? ಇನ್ನೊಬ್ಬರಿಗೆ ಸೇರಿದ ವಸ್ತುಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆಹೋದರೆ, ನಿಮ್ಮ ಸ್ವಂತಕ್ಕೆ ಏನನ್ನಾದರೂ ಕೊಡುವವರಾರು? “ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾಗದು; ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು,” ಎಂದರು. ಹಣದಾಶೆಯಿಂದ ಕೂಡಿದ್ದ ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ, ಯೇಸುವನ್ನು ಪರಿಹಾಸ್ಯಮಾಡಿದರು. ಅದಕ್ಕೆ ಯೇಸು, “ನೀವು ಮಾನವರ ಮುಂದೆ ಸತ್ಪುರುಷರೆಂದು ತೋರಿಸಿಕೊಳ್ಳುತ್ತೀರಿ; ದೇವರಾದರೋ ನಿಮ್ಮ ಅಂತರಂಗವನ್ನು ಅರಿತಿದ್ದಾರೆ. ಮಾನವರಿಗೆ ಅಮೂಲ್ಯವಾದುದು ದೇವರಿಗೆ ಅಸಹ್ಯವಾದುದು,” ಎಂದರು.

06.11.20

ಮೊದಲನೇ ವಾಚನ: ಫಿಲಿಪ್ಪಿಯರಿಗೆ 3:17--4:1

ಸಹೋದರರೇ, ನೀವು ನನ್ನನ್ನು ಅನುಸರಿಸಿರಿ. ನಮ್ಮಂತೆ ಆದರ್ಶಜೀವನ ನಡೆಸುವವರನ್ನು ಅನುಸರಿಸಿ ಬಾಳಿರಿ. ಕ್ರಿಸ್ತಯೇಸುವಿನ ಶಿಲುಬೆಗೆ ವಿರೋಧವಾಗಿ ನಡೆಯುವವರು ಅನೇಕರಿದ್ದಾರೆ. ಇದನ್ನು ನಾನು ಹಲವಾರು ಸಾರಿ ತಿಳಿಸಿರುವಂತೆ ಈಗಲೂ ಅತೀವ ದುಃಖದಿಂದ ಹೇಳುತ್ತಿದ್ದೇನೆ. ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ. ನಾವಾದರೋ ಸ್ವರ್ಗಸಾಮ್ರಾಜ್ಯದ ಪ್ರಜೆಗಳು, ಉದ್ಧಾರಕರಾದ ಪ್ರಭು ಯೇಸುಕ್ರಿಸ್ತರು ಪುನರಾಗಮಿಸುವುದು ಅಲ್ಲಿಂದಲೇ ಎಂದು ಎದುರುನೋಡುತ್ತಿದ್ದೇವೆ. ಅವರು ಸಮಸ್ತವನ್ನು ಸ್ವಾಧೀನಪಡಿಸಿಕೊಳ್ಳುವರು; ನಶ್ವರವಾದ ನಮ್ಮ ದೀನ ದೇಹಗಳನ್ನು ತಮ್ಮ ಶಕ್ತಿಯಿಂದ ರೂಪಾಂತರಗೊಳಿಸಿ ತಮ್ಮ ತೇಜೋಮಯ ಶರೀರದಂತೆ ಮಾಡುವರು. ಹೀಗಿರಲಾಗಿ ಒಲವಿನ ಸಹೋದರರೇ, ನನ್ನ ಅತಿ ಪ್ರಿಯರೇ, ಆಪ್ತರೇ, ನನ್ನ ಮುದವೂ ಮುಕುಟವೂ ಆದವರೇ, ಪ್ರಭುವಿನಲ್ಲಿ ದೃಢ ವಿಶ್ವಾಸಿಗಳಾಗಿ ಬಾಳಿರಿ.

ಕೀರ್ತನೆ: 122:1-2, 3-4, 4-5
ಶ್ಲೋಕ: ಪ್ರಭುವಿನಾಲಯಕೆ ಹೋಗೋಣ ಬಾ
              ಎಂದು ಜನರೆನ್ನ ಕರೆದಾಗ ಆಯಿತೆನಗೆ ಆನಂದ 

ಶುಭಸಂದೇಶ: ಲೂಕ 16:1-8

ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ ಇಂತೆಂದರು: “ಒಬ್ಬ ಧನಿಕನಿದ್ದ. ಅವನ ವ್ಯವಹಾರಗಳನ್ನು ನೋಡಿಕೊಳ್ಳಲು ಒಬ್ಬ ಮೇಸ್ತ್ರಿಯಿದ್ದ. ಇವನು ಧನಿಕನ ಆಸ್ತಿಯನ್ನು ಹಾಳುಮಾಡುತ್ತಿದ್ದಾನೆಂದು ದೂರು ಬಂದಿತು. ಧನಿಕನು ಅವನನ್ನು ಕರೆದು, ‘ಏನಿದು, ನಿನ್ನ ವಿಷಯವಾಗಿ ನಾನು ಹೀಗೆಲ್ಲ ಕೇಳುತ್ತಾ ಇದ್ದೇನೆ? ನಿನ್ನ ಕೆಲಸದ ಲೆಕ್ಕಾಚಾರವನ್ನು ಒಪ್ಪಿಸಿಬಿಡು. ಇನ್ನು ನೀನು ಮೇಸ್ತ್ರಿ ಆಗಿರಲು ಆಗದು,’ ಎಂದ. ಆಗ ಆ ಮೇಸ್ತ್ರಿ, ‘ಈಗ ಏನುಮಾಡಲಿ? ಯಜಮಾನನು ನನ್ನನ್ನು ಕೆಲಸದಿಂದ ತೆಗೆದುಬಿಡುತ್ತಾನಲ್ಲಾ; ಅಗೆಯಲು ಶಕ್ತಿ ಸಾಲದು; ಭಿಕ್ಷೆ ಬೇಡಲು ನನಗೆ ನಾಚಿಕೆ,’ ಎಂದು ಚಿಂತಾಕ್ರಾಂತನಾದ. ಮರುಕ್ಷಣ, ‘ಸರಿ, ಕೆಲಸದಿಂದ ನನ್ನನ್ನು ತೆಗೆದುಹಾಕಿದ ಮೇಲೆ, ಜನರು ನನ್ನನ್ನು ತಮ್ಮ ಮನೆಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ಈಗ ಗೊತ್ತಾಯಿತು,’ ಎಂದುಕೊಂಡ. ಯಜಮಾನನ ಸಾಲಗಾರರನ್ನು ಒಬ್ಬೊಬ್ಬರನ್ನಾಗಿ ಬರಮಾಡಿಕೊಂಡು, ‘ನೀನು ನನ್ನ ಯಜಮಾನನಿಗೆ ತೀರಿಸಬೇಕಾದ ಸಾಲ ಎಷ್ಟು?’ ಎಂದು ಮೊದಲನೆಯವನನ್ನು ಕೇಳಿದ. ಅವನು, ‘ನೂರು ಬುದ್ದಲಿ ಎಣ್ಣೆ,’ ಎಂದ. ಅದಕ್ಕೆ ಮೇಸ್ತ್ರಿ, ‘ಇಗೋ, ನಿನ್ನ ಪತ್ರ, ಕುಳಿತುಕೊಂಡು “ಐವತ್ತು” ಎಂದು ಬೇಗನೆ ಬರೆ,’ ಎಂದ. ಬಳಿಕ ಇನ್ನೊಬ್ಬನನ್ನು ಕರೆದು, ‘ನೀನೆಷ್ಟು ಸಾಲ ತೀರಿಸಬೇಕು?’ ಎಂದು ಕೇಳಿದ. ಅವನು ‘ನೂರು ಖಂಡುಗ ಗೋದಿ’ ಎಂದಾಗ, ‘ಇಗೋ, ನಿನ್ನ ಪತ್ರ, “ಎಂಬತ್ತು” ಎಂದು ಬರೆ,’ ಎಂದ. “ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು."

5.11.20

 ಮೊದಲನೇ ವಾಚನ: ಫಿಲಿಪ್ಪಿಯರಿಗೆ 3:3-8


ಸಹೋದರರೇ, ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ. ಇಂಥ ಬಾಹ್ಯಾಚರಣೆಯಲ್ಲಿ ನಂಬಿಕೆ ಇಡಲು ತಮಗೆ ಹಕ್ಕು ಇದೆಯೆಂದು ಯಾರಾದರೂ ಭಾವಿಸಿದರೆ, ನನ್ನ ಹಕ್ಕು ಅದಕ್ಕೂ ಮಿಗಿಲಾದುದು ಎಂದೇ ಹೇಳುತ್ತೇನೆ. ಹುಟ್ಟಿದ ಎಂಟನೆಯ ದಿನ ನನಗೆ ಸುನ್ನತಿಯಾಯಿತು; ಹುಟ್ಟಿನಿಂದ ನಾನು ಇಸ್ರಯೇಲನು, ಬೆನ್ಯಮೀನ ಕುಲದವನು; ಅಪ್ಪಟ ಹಿಬ್ರಿಯನು, ಧರ್ಮಶಾಸ್ತ್ರದ ದೃಷ್ಟಿಯಲ್ಲಿ ನಿಷ್ಠಾವಂತ ಫರಿಸಾಯನು; ಮತಾಶಕ್ತಿಯ ಹಿತದೃಷ್ಟಿಯಿಂದ ಧರ್ಮಸಭೆಯ ಹಿಂಸಕನು; ಧರ್ಮಶಾಸ್ತ್ರ ವಿಧಿನಿಯಮಗಳ ಪಾಲನೆಯಲ್ಲಿ ನಿಂದಾರಹಿತನು. ಇವನ್ನೆಲ್ಲಾ ಲಾಭವೆಂದು ಪರಿಗಣಿಸಿದ್ದ ನಾನು ಈಗ ಕ್ರಿಸ್ತಯೇಸುವಿನ ಸಲುವಾಗಿ ನಷ್ಟವೆಂದೇ ಎಣಿಸುತ್ತೇನೆ. ನಿಶ್ಚಯವಾಗಿಯೂ ನನ್ನ ಪ್ರಭು ಯೇಸುಕ್ರಿಸ್ತರನ್ನು ಅರಿತುಕೊಳ್ಳುವುದೇ ಉತ್ಕೃಷ್ಟವಾದುದೆಂದು ಮನದಟ್ಟಾಗಿರುವುದರಿಂದ ಸಮಸ್ತವನ್ನೂ ವ್ಯರ್ಥವೆಂದೇ ಎಣಿಸುತ್ತೇನೆ. ಅವರನ್ನು ಲಭ್ಯವಾಗಿಸಿಕೊಳ್ಳುವ ಸಲುವಾಗಿ ಎಲ್ಲವನ್ನೂ ತೊರೆದುಬಿಟ್ಟಿದ್ದೇನೆ, ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ. 

ಕೀರ್ತನೆ: 105:2-3, 4-5, 6-7
ಶ್ಲೋಕ: ಹಿಗ್ಗಲಿ ಹೃದಯ, ಕೋರಿ ಪ್ರಭುವಿನ ದರ್ಶನ 

ಶುಭಸಂದೇಶ: ಲೂಕ 15:1-10

ಯೇಸುಸ್ವಾಮಿಯ ಉಪದೇಶವನ್ನು ಕೇಳಲು ಎಲ್ಲಾ ಸುಂಕದವರೂ ಪಾಪಿಗಳೂ ಬರುತ್ತಿದ್ದರು. ಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, “ಈ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರೊಡನೆ ಊಟಮಾಡುತ್ತಾನೆ,” ಎಂದು ಗೊಣಗಿದರು. ಆ ಸಂದರ್ಭದಲ್ಲಿ ಯೇಸು ಈ ಸಾಮತಿಯನ್ನು ಹೇಳಿದರು: “ನಿಮ್ಮಲ್ಲಿ ಯಾರ ಬಳಿಯಾದರೂ ನೂರು ಕುರಿಗಳು ಇವೆ ಎನ್ನೋಣ. ಅವುಗಳಲ್ಲಿ ಒಂದು ಕುರಿ ಕಾಣದೆಹೋದಾಗ ಅವನೇನು ಮಾಡುತ್ತಾನೆ? ಇರುವ ತೊಂಬತ್ತೊಂಬತ್ತು ಕುರಿಗಳನ್ನು ಹುಲ್ಲುಗಾವಲಿನಲ್ಲೇ ಬಿಟ್ಟು ಕಾಣದೆಹೋದ ಆ ಒಂದು ಕುರಿ ಸಿಕ್ಕುವ ತನಕ ಹುಡುಕಿಕೊಂಡು ಹೋಗುತ್ತಾನಲ್ಲವೆ? ಅದು ಸಿಕ್ಕಿದಾಗ ಸಿಕ್ಕಿತೆಂಬ ಸಂತೋಷದಿಂದ ಅದನ್ನು ಹೆಗಲ ಮೇಲೆ ಎತ್ತಿಕೊಂಡು ಮನೆಗೆ ಬರುತ್ತಾನೆ; ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಿಗೆ ಕರೆಯುತ್ತಾನೆ. ‘ಕಳೆದುಹೋಗಿದ್ದ ಕುರಿ ಸಿಕ್ಕಿತು; ನನ್ನೊಡನೆ ಸೇರಿ ಸಂತೋಷಪಡಿ,’ ಎನ್ನುತ್ತಾನೆ, ಅಲ್ಲವೆ? “ಅದೇ ರೀತಿಯಲ್ಲಿ, ಪಶ್ಚಾತ್ತಾಪದ ಅವಶ್ಯಕತೆಯಿಲ್ಲದ ತೊಂಬತ್ತೊಂಬತ್ತು ಸತ್ಪುರುಷರ ವಿಷಯವಾಗಿ ಸ್ವರ್ಗದಲ್ಲಿ ಉಂಟಾಗುವ ಸಂತೋಷಕ್ಕಿಂತ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ. “ಅಂತೆಯೇ, ಮನೆಯಾಕೆಯೊಬ್ಬಳು ತನ್ನ ಬಳಿಯಿದ್ದ ಹತ್ತು ನಾಣ್ಯಗಳಲ್ಲಿ ಒಂದನ್ನು ಕಳೆದುಕೊಂಡಳು ಎನ್ನೋಣ. ಆಗ ಅವಳೇನು ಮಾಡುತ್ತಾಳೆ? ದೀಪ ಹಚ್ಚಿ ಮನೆಯನ್ನು ಗುಡಿಸಿ, ಕಳೆದುಹೋದ ನಾಣ್ಯ ಸಿಕ್ಕುವವರೆಗೂ ಚೆನ್ನಾಗಿ ಹುಡುಕಾಡುತ್ತಾಳೆ, ಅಲ್ಲವೇ? ಅದು ಸಿಕ್ಕಿದಾಗ ತನ್ನ ಗೆಳತಿಯರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು, ‘ಕಳೆದುಹೋದ ನಾಣ್ಯ ಸಿಕ್ಕಿಬಿಟ್ಟಿತು; ನನ್ನೊಡನೆ ಸೇರಿ ಸಂತೋಷಪಡಿ,’ ಎನ್ನುತ್ತಾಳಲ್ಲವೆ? “ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.

04.11.20 - "ನಿಮ್ಮಲ್ಲಿ ಯಾವನು ತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ."

 ಮೊದಲನೇ ವಾಚನ: ಫಿಲಿಪ್ಪಿಯರಿಗೆ 2:12-18 

ಸಹೋದರರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ, ನಾನು ದೂರವಿರುವಾಗ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿ. ನಿಮ್ಮ ಜೀವೋದ್ಧಾರಕ್ಕಾಗಿ ಭಯಭಕ್ತಿಯಿಂದ ಶ್ರಮಿಸಿರಿ. ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸತ್ಫಲವನ್ನೂ ನೀಡುತ್ತಾರೆ. ನೀವು ಮಾಡುವ ಎಲ್ಲಾ ಕಾರ್ಯಗಳನ್ನು ಗೊಣಗುಟ್ಟದೆ, ವಿವಾದವಿಲ್ಲದೆ, ಏಕಮನಸ್ಸಿನಿಂದ ಮಾಡಿ. ನಿರ್ದೋಷಿಗಳೂ ನಿಷ್ಕಳಂಕರೂ ಆಗಿರಿ. ವಕ್ರಬುದ್ಧಿಯ ದುಷ್ಟಜನರ ನಡುವೆ ದೇವರ ಪರಿಶುದ್ಧ ಮಕ್ಕಳಂತೆ ಬಾಳಿರಿ. ಜೀವದಾಯಕ ಸಂದೇಶವನ್ನು ಎತ್ತಿಹಿಡಿಯಿರಿ; ಆಗ ನಕ್ಷತ್ರಗಳು ಆಕಾಶವನ್ನು ಬೆಳಗಿಸುವಂತೆ ಪ್ರಪಂಚದಲ್ಲಿ ನೀವು ಕಂಗೊಳಿಸುವಿರಿ. ಹೀಗೆ ನೀವು ನಡೆದುಕೊಂಡರೆ ನನ್ನ ಸೇವೆ ವ್ಯರ್ಥವಾಗದೆ, ಶ್ರಮೆ ನಿಷ್ಫಲವಾಗದೆ, ಫಲಪ್ರದವಾಯಿತೆಂದು ಕ್ರಿಸ್ತರ ದಿನದಂದು ನಾನು ಹೆಮ್ಮೆಪಡಬಹುದು. ನಿಮ್ಮ ವಿಶ್ವಾಸವೆಂಬ ಬಲಿಕಾಣಿಕೆಯ ಮೇಲೆ ನನ್ನ ರಕ್ತವನ್ನು ಧಾರೆಯಾಗಿ ಹರಿಸಬೇಕಾಗಿಬಂದರೂ ನನಗೆ ಸಂತೋಷವೇ; ನಿಮ್ಮೆಲ್ಲರೊಡನೆ ಸೇರಿ ಸಂತೋಷಿಸುತ್ತೇನೆ. ಅದೇ ರೀತಿ ನೀವು ಸಹ ನನ್ನೊಡನೆ ಸಂತೋಷದಿಂದ ಸಂಭ್ರಮಿಸಿರಿ.

ಕೀರ್ತನೆ: 27:1, 4, 13-14

ಶ್ಲೋಕ:  ನನಗೆ ಬೆಳಕು, ನನಗೆ ರಕ್ಷೆ ಪ್ರಭುವೇ 

ಶುಭಸಂದೇಶ: ಲೂಕ 14:25-33


ಜನರು ಗುಂಪುಗುಂಪಾಗಿ ಯೇಸುಸ್ವಾಮಿಯ ಸಂಗಡ ಹೋಗುತ್ತಿದ್ದರು. ಆಗ ಯೇಸು ಅವರ ಕಡೆಗೆ ತಿರುಗಿ ಹೀಗೆಂದರು: “ನನ್ನಲ್ಲಿಗೆ ಬರುವ ಯಾರೊಬ್ಬನು ತನ್ನ ತಂದೆ-ತಾಯಿ, ಹೆಂಡತಿ-ಮಕ್ಕಳು, ಸೋದರ-ಸೋದರಿಯರನ್ನು ಮಾತ್ರವಲ್ಲ, ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು. ತನ್ನ ಶಿಲುಬೆಯನ್ನು ಹೊತ್ತು ನನ್ನ ಹಿಂದೆ ಬರದವನು ನನ್ನ ಶಿಷ್ಯನಾಗಲಾರನು. ನಿಮ್ಮಲ್ಲಿ ಒಬ್ಬನು ಒಂದು ಗೋಪುರವನ್ನು ಕಟ್ಟಲು ಇಚ್ಛಿಸಿದರೆ, ಕೆಲಸವನ್ನು ಮುಗಿಸಲು ತನ್ನಿಂದ ಸಾಧ್ಯವೇ ಎಂದು ನೋಡಲು, ಮೊದಲು ಕುಳಿತು, ಬೇಕಾಗುವ ಖರ್ಚುವೆಚ್ಚವನ್ನು ಲೆಕ್ಕಹಾಕುವುದಿಲ್ಲವೇ? ಇಲ್ಲದೆಹೋದರೆ, ಇವನು ಅಸ್ತಿವಾರ ಹಾಕಿದ ಮೇಲೆ ಕೆಲಸ ಪೂರೈಸದೆ ಇರುವುದನ್ನು ಕಂಡು, ಕಟ್ಟಲಾರಂಭಿಸಿದ; ಮುಗಿಸಲು ಇವನಿಂದಾಗಲಿಲ್ಲ!’ ಎಂದು ನೋಡುವವರೆಲ್ಲರೂ ಅವನನ್ನು ಪರಿಹಾಸ್ಯಮಾಡುವರು. ಹಾಗೆಯೇ, ಅರಸನೊಬ್ಬನು ಇನ್ನೊಬ್ಬ ಅರಸನ ವಿರುದ್ಧ ಯುದ್ಧಕ್ಕೆ ಹೋಗುವುದಕ್ಕೆ ಮುಂಚೆ ಇಪ್ಪತ್ತು ಸಾವಿರ ಸೈನ್ಯದೊಡನೆ ಬರುವ ಶತ್ರುವನ್ನು ತನ್ನ ಹತ್ತು ಸಾವಿರ ಸೈನ್ಯದಿಂದ ಎದುರಿಸಲು ಸಾಧ್ಯವೇ ಎಂದು ಮೊದಲು ಕುಳಿತು ಆಲೋಚನೆ ಮಾಡುವುದಿಲ್ಲವೇ? ಸಾಧ್ಯವಿಲ್ಲದಿದ್ದರೆ, ಶತ್ರು ರಾಜನು ದೂರದಲ್ಲಿರುವಾಗಲೇ ದೂತರನ್ನು ಕಳುಹಿಸಿ, ಸಂಧಾನಕ್ಕೆ ಷರತ್ತುಗಳೇನೆಂದು ವಿಚಾರಿಸುತ್ತಾನೆ. ಅದೇ ಮೇರೆಗೆ, ನಿಮ್ಮಲ್ಲಿ ಯಾವನು ತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ."

03.11.20 - “ದೇವರ ಸಾಮ್ರಾಜ್ಯದ ಔತಣದಲ್ಲಿ ಭಾಗಿಯಾಗುವವನು ಎಷ್ಟೋ ಧನ್ಯನು!”

 ಮೊದಲನೇ ವಾಚನ: ಫಿಲಿಪ್ಪಿಯರಿಗೆ 2:5-11

ಸಹೋದರರೇ, ಕ್ರಿಸ್ತಯೇಸುವಿನಲ್ಲಿರುವ ಮನೋಭಾವ ನಿಮ್ಮಲ್ಲೂ ನೆಲಸಿರಲಿ: ದೇವಸ್ವರೂಪಿ ತಾನಾಗಿದ್ದರೂ ನಿರುತ ದೇವರಿಗೆ ಸಮನಾದ ಆ ಸಿರಿ ಪದವಿಯನಾತ ಹಿಡಿದಿಟ್ಟುಕೊಳ್ಳಲಿಲ್ಲ ಬಿಡಲೊಲ್ಲೆನೆನುತ. ತನ್ನನ್ನೇ ಬರಿದುಮಾಡಿಕೊಂಡು ದಾಸನ ರೂಪವನು ಧರಿಸಿಕೊಂಡು ಮನುಜನಾಕಾರದಲಿ ಕಾಣಿಸಿಕೊಂಡು ನರಮಾನವರಿಗೆ ಸರಿಸಮನಾದ. ತನ್ನನ್ನೇ ಆತ ತಗ್ಗಿಸಿಕೊಂಡು ವಿಧೇಯನಾಗಿ ನಡೆದುಕೊಂಡು ಮರಣಪರಿಯಂತ ಹೌದೌದು, ಶಿಲುಬೆಯ ಮರಣಪರಿಯಂತ ವಿಧೇಯನಾದ. ಎಂತಲೇ ಪರಮೋನ್ನತ ಸ್ಥಾನಕ್ಕೇರಿಸಿದನಾತನನು ಇತ್ತನು ಹೆಸರುಗಳೊಳುತ್ತಮ ಹೆಸರನು ದೇವಪರಮನು. ಯೇಸುವಿನ ಹೆಸರಿಗೆಂದೇ ಮೊಣಕಾಲೂರಿ ಮಣಿವರು ಸ್ವರ್ಗವಾಸಿಗಳು, ಭೂನಿವಾಸಿಗಳು, ಪಾತಾಳ ಜೀವರಾಶಿಗಳು. ‘ಕ್ರಿಸ್ತಯೇಸುವೇ ಪ್ರಭು' ಎಂದೆಲ್ಲರಿಗೆ ಅರಿಕೆ ಮಾಡುವರು ಪಿತದೇವನ ಮಹಿಮೆಯನು ಈ ಪರಿ ಹೊಗಳಿ ಸಾರುವರವರು.

ಕೀರ್ತನೆ: 22:26-27, 28-30, 31-32

ಶ್ಲೋಕ: ಪ್ರಭೂ, ನೀನೇ ಸ್ಫೂರ್ತಿ ತುಂಬು ಸಭೆಯಲಿ ನಾ ಮಾಳ್ಪ ಸ್ತುತಿಗೆ

ಶುಭಸಂದೇಶ: ಲೂಕ 14:15-24



ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಯೇಸುಸ್ವಾಮಿ ಹೇಳಿದ್ದನ್ನು ಕೇಳಿ, “ದೇವರ ಸಾಮ್ರಾಜ್ಯದ ಔತಣದಲ್ಲಿ ಭಾಗಿಯಾಗುವವನು ಎಷ್ಟೋ ಧನ್ಯನು!” ಎಂದನು. ಯೇಸು ಅವನಿಗೆ ಈ ಸಾಮತಿ ಹೇಳಿದರು: “ಒಬ್ಬಾತ ಒಂದು ದೊಡ್ಡ ಔತಣವನ್ನೇರ್ಪಡಿಸಿ ಅನೇಕ ಜನರಿಗೆ ಆಹ್ವಾನವಿತ್ತ. ಊಟಕ್ಕೆ ವೇಳೆಯಾದಾಗ, ‘ಈಗ ಎಲ್ಲಾ ಸಿದ್ಧವಾಗಿದೆ ಬನ್ನಿ,’ ಎಂದು ಹೇಳಿ ಆಹ್ವಾನಿತರನ್ನು ಕರೆದುತರಲು ಸೇವಕರನ್ನು ಕಳಿಸಿದ. ಆದರೆ ಆಹ್ವಾನಿತರೆಲ್ಲರೂ ಒಬ್ಬರಾದ ಮೇಲೊಬ್ಬರು ‘ಕ್ಷಮಿಸಬೇಕು,’ ಎಂದು ಹೇಳಲಾರಂಭಿಸಿದರು. ಒಬ್ಬ, ‘ಕ್ಷಮಿಸಬೇಕು, ಒಂದು ಹೊಲ ಕೊಂಡುಕೊಂಡಿದ್ದೇನೆ, ಅಲ್ಲಿಗೆ ಹೋಗಿ ನೋಡಬೇಕಾಗಿದೆ,’ ಎಂದ. ಇನ್ನೊಬ್ಬ, ‘ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸಲು ಹೋಗುತ್ತಿದ್ದೇನೆ. ನನ್ನನ್ನು ಕ್ಷಮಿಸಬೇಕು,’ ಎಂದ. ಮತ್ತೊಬ್ಬ, ‘ನನಗೆ ಈಗ ತಾನೆ ಮದುವೆ ಆಗಿದೆ, ಬರುವುದಕ್ಕಾಗುವುದಿಲ್ಲ,’ ಎಂದನು. “ಆ ಸೇವಕನು ಬಂದು ಯಜಮಾನನಿಗೆ ಹಾಗೆಯೇ ವರದಿ ಮಾಡಿದ. ಇದನ್ನು ಕೇಳಿ ಯಜಮಾನನಿಗೆ ರೋಷಬಂದಿತು. ಅವನು ಸೇವಕನಿಗೆ, ‘ಪಟ್ಟಣದ ಹಾದಿಬೀದಿಗಳಿಗೂ ಸಂದುಗೊಂದುಗಳಿಗೂ ಹೋಗಿ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆದುಕೊಂಡು ಬಾ,’ ಎಂದು ಆಜ್ಞೆಮಾಡಿದ. ಸೇವಕನು ಬಂದು, ‘ಸ್ವಾಮೀ, ನಿಮ್ಮ ಆಜ್ಞೆಯಂತೆ ಮಾಡಿದ್ದಾಯಿತು; ಆದರೆ ಇನ್ನೂ ಸ್ಥಳವಿದೆ,’ ಎಂದು ಹೇಳಿದ. ಅದಕ್ಕೆ ಯಜಮಾನ ‘ಹಾಗಾದರೆ ಹಳ್ಳಿಹಾದಿಗಳಿಗೂ ಎಲ್ಲೆ ಬೇಲಿಗಳವರೆಗೂ ಹೋಗಿ ಕಂಡಕಂಡವರನ್ನು ಒತ್ತಾಯ ಮಾಡಿ ಕರೆದುಕೊಂಡು ಬಾ. ನನ್ನ ಮನೆ ತುಂಬಿಹೋಗಲಿ. ಆದರೆ ಮೊದಲು ಆಹ್ವಾನಿತರಾದವರಲ್ಲಿ ಒಬ್ಬನೂ ನಾನು ಮಾಡಿಸಿದ ಅಡುಗೆಯ ರುಚಿ ನೋಡಬಾರದು!' ಎಂದು ಸ್ಪಷ್ಟಪಡಿಸಿದ". 

02.11.20 - “ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,”

 ಮೊದಲನೇ ವಾಚನ: ಜ್ಞಾನಗ್ರಂಥ 3:1-9


ಸಜ್ಜನರ ಆತ್ಮಗಳಿರುವುವು ದೇವರ ಕೈಯೊಳು ಅವರನ್ನು ಮುಟ್ಟದು ಮಹಾಯಾತನೆ ಯಾವುದು. ಮಂದಮತಿಯ ಕಣ್ಣಿಗೆ ಸತ್ತವರಂತೆ ಅವರು ಕಾಣಿಸಿಕೊಂಡರು ಅವರು ಗತಿಸಿ ಹೋದುದು ಅವನಿಂದ ತೊಲಗಿದ ಕೇಡಂತಿತ್ತು. ಸಜ್ಜನರಿಗಾದ ಸಾವು ಮಹಾ ವಿಪತ್ತು ಎಂದವನಿಗೆ ತೋರಿತು ಅವರಾದರೋ ಶಾಂತಿಸಮಾಧಾನದಿಂದ ನೆಮ್ಮದಿಯಾಗಿರುವರು. ಮಾನವನ ದೃಷ್ಟಿಯಲ್ಲಿ ಅವರು ಕಂಡುಬಂದರು ಶಿಕ್ಷಿಸಲ್ಪಟ್ಟವರಂತೆ ಅವರಲ್ಲಾದರೋ ತುಂಬಿತ್ತು ಅಮರತ್ವದ ನಂಬಿಕೆ ನಿರೀಕ್ಷೆ. ಅವರು ಅನುಭವಿಸಿದ ಶಿಕ್ಷೆ ಅಲ್ಪ, ಹೊಂದುವ ಸೌಭಾಗ್ಯ ಅಪಾರ ಶೋಧಿಸಿದ ತರುವಾಯ ದೇವರಿಗೆ ಅವರು ಕಂಡುಬಂದರು ಯೋಗ್ಯಾರ್ಹ. ಶೋಧಿಸಿದರವರನು ಪುಟಕ್ಕಿಟ್ಟ ಚಿನ್ನದಂತೆ ಅಂಗೀಕೃತರಾದರು ಪೂರ್ಣ ದಹನಬಲಿಯಂತೆ. ಪ್ರಕಾಶಿಸುವರು ದೇವರನು ಸಂದರ್ಶಿಸುವ ಕಾಲದಲಿ ಹೊಳೆಯುವರು ಒಣಹುಲ್ಲಿನೊಳಗಿನ ಕಿಡಿಗಳೋಪಾದಿ. ನ್ಯಾಯತೀರಿಸುವರವರು ಜನಾಂಗಗಳಿಗೆ ದೊರೆತನ ಮಾಡುವರವರು ಜನಗಳ ಮೇಲೆ ದೇವರ ಪ್ರಜೆಗಳಾಗಿರುವರು ಸದಾಕಾಲಕೆ. ಸತ್ಯವನು ಅರಿವರು ದೇವರಲಿ ಭರವಸೆಯಿಡುವವರು ಅವರೊಂದಿಗೆ ಪ್ರೀತಿಯಿಂದ ಬಾಳುವರು ನಂಬಿಗಸ್ತರು. ದೇವರಿಂದ ಆಯ್ಕೆಯಾದವರಿಗಿರುವುದು ಕೃಪಾನುಗ್ರಹವು ದೇವರೇ ಕಾಪಾಡುವರು ಸಜ್ಜನರನು.

ಕೀರ್ತನೆ: 23:1-3, 3-4, 5, 6

ಶ್ಲೋಕ: ಪ್ರಭು ಕುರಿಗಾಹಿಯಾಗಿರಲು ನನಗೆ ಕುಂದುಕೊರತೆಗಳೆಲ್ಲಿಯವು ಎನಗೆ? 

ಎರಡನೇ ವಾಚನ: ರೋಮನರಿಗೆ 6:3-9

ಕ್ರಿಸ್ತಯೇಸುವಿನವರಾಗಲು ದೀಕ್ಷಾಸ್ನಾನ ಹೊಂದಿರುವ ನಾವು, ಅವರ ಮರಣದಲ್ಲಿ ಪಾಲುಗಾರರಾಗಲು ದೀಕ್ಷಾಸ್ನಾನ ಪಡೆದೆವು ಎಂಬುದು ನಿಮಗೆ ತಿಳಿಯದೆ? ಹೀಗಿರಲಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡಾಗ ಅವರ ಮರಣದಲ್ಲಿ ಪಾಲುಗಾರರಾದ ನಮಗೆ ಅವರೊಡನೆ ಸಮಾಧಿಯೂ ಆಯಿತು. ಆದುದರಿಂದ ತಂದೆಯ ಮಹಿಮಾಶಕ್ತಿಯಿಂದ ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದಂತೆಯೇ ನಾವು ಸಹ ಹೊಸ ಜೀವವನ್ನು ಹೊಂದಿ ಬಾಳುತ್ತೇವೆ. ಅವರು ಮರಣ ಹೊಂದಿದಂತೆ ನಾವೂ ಅವರೊಂದಿಗೆ ಐಕ್ಯವಾಗಿ ಮರಣವನ್ನು ಹೊಂದುತ್ತೇವೆ. ಅಂತೆಯೇ, ಅವರು ಪುನರುತ್ಥಾನ ಆದಂತೆ ನಾವೂ ಅವರೊಡನೆ ಐಕ್ಯವಾಗಿ ಪುನರುತ್ಥಾನ ಹೊಂದುತ್ತೇವೆ. ನಮಗೆ ತಿಳಿದಿರುವಂತೆ ಪಾಪಾಧೀನವಾದ ನಮ್ಮ ಸ್ವಭಾವವು ನಾಶವಾಗುವಂತೆಯೂ ಇನ್ನು ಮುಂದೆ ನಾವು ಪಾಪಕ್ಕೆ ದಾಸರಾಗಿರದಂತೆಯೂ ಯೇಸುಕ್ರಿಸ್ತರೊಡನೆ ನಮ್ಮ ಹಳೆಯ ಸ್ವಭಾವವನ್ನು ಶಿಲುಬೆಗೆ ಜಡಿಯಲಾಗಿದೆ. ಹೀಗೆ ಸತ್ತವನು ಪಾಪಬಂಧದಿಂದ ಬಿಡುಗಡೆ ಹೊಂದಿದವನು. ಕ್ರಿಸ್ತ ಯೇಸುವಿನೊಂದಿಗೆ ನಾವು ಮರಣ ಹೊಂದಿದ್ದರೆ ಅವರೊಡನೆ ನಾವೂ ಜೀವಿಸುತ್ತೇವೆ; ಇದೇ ನಮ್ಮ ವಿಶ್ವಾಸ. ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಲಾಯಿತು ಎಂಬುದನ್ನು ನಾವು ಬಲ್ಲೆವು. ಆದ್ದರಿಂದ ಅವರು ಇನ್ನು ಎಂದಿಗೂ ಸಾಯುವುದಿಲ್ಲ; ಸಾವಿಗೆ ಅವರ ಮೇಲೆ ಯಾವ ಅಧಿಕಾರವೂ ಇಲ್ಲ. 

ಶುಭಸಂದೇಶ: ಮತ್ತಾಯ 25: 31-46


“ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು. ಸರ್ವಜನಾಂಗಗಳನ್ನು ಆತನ ಸಮ್ಮುಖದಲ್ಲಿ ಒಟ್ಟುಗೂಡಿಸಲಾಗುವುದು. ಕುರುಬನು ಕುರಿಗಳನ್ನು ಆಡುಗಳಿಂದ ಬೇರ್ಪಡಿಸುವಂತೆ ಆತನು ಅವರನ್ನು ಬೇರ್ಪಡಿಸುವನು. ಕುರಿಗಳನ್ನು ತನ್ನ ಬಲಗಡೆಯಲ್ಲೂ ಆಡುಗಳನ್ನು ತನ್ನ ಎಡಗಡೆಯಲ್ಲೂ ಇರಿಸುವನು. ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ. ಏಕೆಂದರೆ, ನಾನು ಹಸಿದಿದ್ದೆ, ನನಗೆ ಆಹಾರ ಕೊಟ್ಟಿರಿ; ಬಾಯಾರಿದ್ದೆ, ಕುಡಿಯಲು ಕೊಟ್ಟಿರಿ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ಕೊಟ್ಟಿರಿ. ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಟ್ಟಿರಿ. ರೋಗದಿಂದಿದ್ದೆ, ನನ್ನನ್ನು ಆರೈಕೆ ಮಾಡಿದಿರಿ. ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಿದಿರಿ,’ ಎಂದು ಹೇಳುವನು. ಅದಕ್ಕೆ ಆ ಸಜ್ಜನರು, ‘ಸ್ವಾವಿೂ, ತಾವು ಯಾವಾಗ ಹಸಿದಿದ್ದನ್ನು ಕಂಡು ನಾವು ಆಹಾರ ಕೊಟ್ಟೆವು? ಬಾಯಾರಿದ್ದನ್ನು ಕಂಡು ಕುಡಿಯಲು ಕೊಟ್ಟೆವು? ಯಾವಾಗ ತಾವು ಅಪರಿಚಿತರಾಗಿದ್ದನ್ನು ಕಂಡು ನಾವು ಆಶ್ರಯ ಕೊಟ್ಟೆವು? ಬಟ್ಟೆಬರೆಯಿಲ್ಲದ್ದನ್ನು ಕಂಡು ಉಡಲು ಕೊಟ್ಟೆವು? ತಾವು ರೋಗಿಯಾಗಿರುವುದನ್ನು ಅಥವಾ ಬಂಧಿಯಾಗಿರುವುದನ್ನು ಕಂಡು ನಾವು ಸಂಧಿಸಲು ಬಂದೆವು?’ ಎಂದು ಕೇಳುವರು. ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು. “ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ. ಏಕೆಂದರೆ ನಾನು ಹಸಿದಿದ್ದೆ, ನೀವು ನನಗೆ ಆಹಾರ ಕೊಡಲಿಲ್ಲ; ಬಾಯಾರಿದ್ದೆ, ಕುಡಿಯಲು ಕೊಡಲಿಲ್ಲ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ನೀಡಲಿಲ್ಲ. ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಡಲಿಲ್ಲ; ರೋಗಿಯಾಗಿದ್ದೆ, ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಲಿಲ್ಲ,’ ಎಂದು ಹೇಳುವನು. ಅದಕ್ಕೆ ಅವರು ಕೂಡ, ‘ಸ್ವಾವಿೂ, ತಾವು ಯಾವಾಗ ಹಸಿದಿದ್ದಿರಿ, ಬಾಯಾರಿದ್ದಿರಿ, ಅಪರಿಚಿತರಾಗಿದ್ದಿರಿ, ಯಾವಾಗ ಬಟ್ಟೆಬರೆ ಇಲ್ಲದೆ ಇದ್ದಿರಿ, ರೋಗಿಯಾಗಿದ್ದಿರಿ ಮತ್ತು ಬಂಧಿಯಾಗಿದ್ದಿರಿ ಮತ್ತು ನಾವು ಅವನ್ನು ಕಂಡು ನಿಮಗೆ ಉಪಚಾರಮಾಡದೆ ಹೋದೆವು? ಎಂದು ಪ್ರಶ್ನಿಸುವರು. ಅದಕ್ಕೆ ಪ್ರತ್ಯುತ್ತರವಾಗಿ ಅರಸನು, ‘ಇವರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆಹೋದಾಗ ಅದನ್ನು ನನಗೇ ಮಾಡಲಿಲ್ಲ,’ ಎನ್ನುವನು. “ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.