15.11.20 - "ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು,"

ಮೊದಲನೇ ವಾಚನ: ಜ್ಞಾನೋಕ್ತಿಗಳು 31:10-13, 19-20, 30-31

ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು? ಆಕೆ ಹವಳಕ್ಕಿಂತಲೂ ಬಹು ಮೌಲ್ಯಳು. ಗಂಡನು ಆಕೆಯಲ್ಲಿ ಹೃತ್ಪೂರ್ವಕ ನಂಬಿಕೆಯಿಡುವನು; ಅವನಿಗೆ ಆದಾಯದ ಕೊರತೆ ಇರದು. ಜೀವಮಾನವಿಡೀ ಆಕೆ ಅವನಿಗೆ ಒಳ್ಳೆಯದನ್ನೆ ಮಾಡುವಳು; ಎಂದಿಗೂ ಆಕೆ ಅವನಿಗೆ ಕೇಡನ್ನು ಬಗೆಯಳು. ಉಣ್ಣೆಯನ್ನೂ ಸೆಣಬನ್ನೂ ಹುಡುಕಿ ತರುವಳು; ತನ್ನ ಕೈಗಳಿಂದಲೇ ಬಟ್ಟೆಯನ್ನು ನೇಯುವಳು. ರಾಟೆಯನ್ನು ತಾನೆ ಆಡಿಸುತ್ತಾಳೆ; ಕದಿರನ್ನು ಕೈಯಿಂದ ಹಿಡಿಯುತ್ತಾಳೆ. ಬಡವರಿಗೆ ಕೈಬಿಚ್ಚಿ ಕೊಡುತ್ತಾಳೆ; ದಿಕ್ಕಿಲ್ಲದವರಿಗೆ ಕೈಚಾಚಿ ನೀಡುತ್ತಾಳೆ. ಆಕರ್ಷಣೆ ನೆಚ್ಚತಕ್ಕದಲ್ಲ. ಅಲಂಕಾರ ನೆಲೆಯಾದುದಲ್ಲ; ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವಳೆ ಸ್ತುತ್ಯಾರ್ಹಳು. ಆಕೆಯ ಕೈ ಕೆಲಸಕ್ಕೆ ತಕ್ಕ ಪ್ರತಿಫಲ ಲಭಿಸಲಿ; ಆಕೆಯ ಕಾರ್ಯಗಳೇ ಆಕೆಯನ್ನು ಪುರದ್ವಾರಗಳಲ್ಲಿ ಹೊಗಳಲಿ!

ಕೀರ್ತನೆ: 128:1-2, 3, 4-5
ಶ್ಲೋಕ: ಧನ್ಯನು ಪ್ರಭುವಿನಲಿ ಭಯಭಕ್ತಿಯುಳ್ಳವನು. 

ಎರಡನೇ ವಾಚನ: 1 ಥೆಸೆಲೋನಿಯರಿಗೆ 5:1-6


ಸಹೋದರರೇ, ಇದೆಲ್ಲ ನಡೆಯಲಿರುವ ಸಮಯ ಸಂದರ್ಭಗಳನ್ನು ಕುರಿತು ನಿಮಗೆ ಬರೆಯುವ ಅವಶ್ಯಕತೆಯಿಲ್ಲ.  ರಾತ್ರಿಯಲ್ಲಿ ಕಳ್ಳನು ಬರುವ ಹಾಗೆ ಪ್ರಭುವಿನ ದಿನವು ಬರುವುದೆಂದು ನೀವು ಚೆನ್ನಾಗಿ ಬಲ್ಲಿರಿ. ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ. ಸಹೋದರರೇ, ಕಳ್ಳನಂತೆ ಆ ದಿನವು ನಿಮ್ಮನ್ನು ದಿಗ್ಭ್ರಮೆಗೊಳಿಸದಿರಲಿ. ಏಕೆಂದರೆ, ನೀವಿನ್ನು ಅಂಧಕಾರಕ್ಕೆ ಸೇರಿದವರಲ್ಲ. ಆ ದಿನವು ದಿಢೀರನೆ ನಿಮ್ಮ ಮೇಲೆ ಬರಬಾರದು. ನೀವೆಲ್ಲರೂ ಬೆಳಕಿನ ಹಾಗೂ ಹಗಲಿನ ಮಕ್ಕಳು. ನಾವು ಕತ್ತಲೆಗಾಗಲಿ, ರಾತ್ರಿಗಾಗಲಿ ಸೇರಿದವರಲ್ಲ. ಅಂದ ಮೇಲೆ, ಇತರರಂತೆ ನಾವು ನಿದ್ದೆಮಾಡದೆ ಎಚ್ಚರವಾಗಿದ್ದು ಸ್ವಸ್ಥಚಿತ್ತರಾಗಿ ವರ್ತಿಸೋಣ.

ಶುಭಸಂದೇಶ:, ಮತ್ತಾಯ 25:14-30



ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: “ಅದೂ ಅಲ್ಲದೆ ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಇಂತಿರುವುದು: ಒಬ್ಬಾತ ಪ್ರವಾಸ ಹೊರಡಲಿದ್ದ. ತನ್ನ ಸೇವಕರನ್ನು ಕರೆದು ಅವರ ವಶಕ್ಕೆ ತನ್ನ ಆಸ್ತಿಯನ್ನು ಒಪ್ಪಿಸಿದ. ಒಬ್ಬನಿಗೆ ಐದು ತಲೆಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು - ಹೀಗೆ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ವಹಿಸಿಕೊಟ್ಟು ಹೊರಟುಹೋದ. ಐದು ತಲೆಂತು ಪಡೆದ ಸೇವಕ ಒಡನೇ ಹೋಗಿ ಆ ಮೊತ್ತದಿಂದ ವ್ಯಾಪಾರಮಾಡಿ ಇನ್ನೂ ಐದನ್ನು ಸಂಪಾದಿಸಿದ. ಎರಡು ಪಡೆದವನೂ ಹಾಗೆಯೇ ಮಾಡಿ ಇನ್ನೂ ಎರಡನ್ನು ಸಂಪಾದಿಸಿದ. ಒಂದು ತಲೆಂತು ಪಡೆದವನು ಮಾತ್ರ, ಅದನ್ನು ತೆಗೆದುಕೊಂಡು ಹೋಗಿ ಭೂಮಿ ಅಗೆದು, ಅದರಲ್ಲಿ ತನ್ನ ಧಣಿಯ ಆ ಹಣವನ್ನು ಹೂತಿಟ್ಟ. ಬಹಳ ಕಾಲವಾದ ಬಳಿಕ ಆ ಧಣಿ ಹಿಂದಿರುಗಿಬಂದ. ಸೇವಕರಿಂದ ಲೆಕ್ಕಾಚಾರ ಕೇಳಿದ. ಐದು ತಲೆಂತು ಪಡೆದವನು ಇನ್ನೂ ಐದು ತಲೆಂತುಗಳನ್ನು ಮುಂದೆ ತಂದು, ‘ಒಡೆಯಾ, ನೀವು ನನ್ನ ವಶಕ್ಕೆ ಐದು ತಲೆಂತು ಒಪ್ಪಿಸಿದಿರಿ. ಇಗೋ ನೋಡಿ, ಮತ್ತೆ ಐದು ತಲೆಂತು ಸಂಪಾದಿಸಿದ್ದೇನೆ,’ ಎಂದ. ಅದಕ್ಕೆ ಆ ಧಣಿ, “ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ, ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು,’ ಎಂದ. ಎರಡು ತಲೆಂತು ಪಡೆದಿದ್ದವನೂ ಮುಂದೆ ಬಂದು, ‘ಒಡೆಯಾ, ನೀವು ನನ್ನ ವಶಕ್ಕೆ ಎರಡು ತಲೆಂತುಗಳನ್ನು ಒಪ್ಪಿಸಿದಿರಿ. ಇಗೋ ನೋಡಿ, ಇನ್ನೂ ಎರಡು ತಲೆಂತುಗಳನ್ನು ಸಂಪಾದಿಸಿದ್ದೇನೆ,’ ಎಂದ. ಧಣಿ ಅವನಿಗೂ, ‘ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ. ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೂ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ನೀನೂ ಭಾಗಿಯಾಗು,’ ಎಂದ. ತರುವಾಯ ಒಂದು ತಲೆಂತು ಪಡೆದವನೂ ಮುಂದೆ ಬಂದ; ‘ಒಡೆಯಾ, ನಿಮ್ಮ ಮನಸ್ಸು ಕಠಿಣ ಎಂಬುದನ್ನು ನಾನು ಬಲ್ಲೆ. ನೀವು ಬಿತ್ತದ ಎಡೆಯಲ್ಲಿ ಕೊಯ್ಲುಮಾಡುವವರು; ನೀವು ತೂರದ ಎಡೆಯಲ್ಲಿ ರಾಶಿಮಾಡುವವರು; ಆದ್ದರಿಂದ ನಾನು ಭಯಪಟ್ಟೆ; ಹೋಗಿ ನಿಮ್ಮ ತಲೆಂತನ್ನು ಭೂಮಿಯಲ್ಲಿ ಹೂತಿಟ್ಟೆ. ಇಗೋ, ಸ್ವೀಕರಿಸಿ, ನಿಮ್ಮದು ನಿಮಗೆ ಸಂದಿದೆ,’ ಎಂದ. “ಆಗ ಧಣಿ ಅವನಿಗೆ, ‘ಎಲವೋ, ಮೈಗಳ್ಳನಾದ ದುಷ್ಟ ಸೇವಕ, ನಾನು ಬಿತ್ತದ ಎಡೆಯಲ್ಲಿ ಕೊಯ್ಲುಮಾಡುವವನು; ನಾನು ತೂರದ ಎಡೆಯಲ್ಲಿ ರಾಶಿಮಾಡುವವನು ಎಂದು ನಿನಗೆ ಗೊತ್ತಿತ್ತಲ್ಲವೆ? ಹಾಗಾದರೆ ನನ್ನ ಹಣವನ್ನು ನೀನು ಬಡ್ಡಿ ಅಂಗಡಿಯಲ್ಲಿ ಹಾಕಿಡಬೇಕಿತ್ತು; ನಾನು ಬಂದು ಬಡ್ಡಿಸಮೇತ ನನ್ನ ಅಸಲನ್ನು ಪಡೆಯುತ್ತಿದ್ದೆ,’ ಎಂದ. ಅನಂತರ ಪರಿಚಾರಕರಿಗೆ, ‘ಇವನಿಂದ ಆ ತಲೆಂತು ನಾಣ್ಯವನ್ನು ಕಿತ್ತು ಹತ್ತು ತಲೆಂತು ಇರುವವನಿಗೆ ಕೊಡಿ. ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ. ಅಪ್ರಯೋಜಕನಾದ ಈ ಸೇವಕನನ್ನು ಹೊರಗಿನ ಕಗ್ಗತ್ತಲೆಗೆ ದಬ್ಬಿರಿ. ಅಲ್ಲಿ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು,’ ಎಂದು ಹೇಳಿದ."

14.11.20 - "ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲುರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯ ತೀರಿಸದೆ ಹೋಗುವರೆ?"

 ಮೊದಲನೇ ವಾಚನ: 3 ಯೊಹಾನ್ನ 1:5-8

ಪ್ರಿಯನೇ, ಸಹೋದರರಿಗೆ - ಮುಖ್ಯವಾಗಿ ಅಪರಿಚಿತರಿಗೆ ಸತ್ಕಾರ್ಯವನ್ನು ಮಾಡುವುದರಲ್ಲಿ ನೀನು ತುಂಬಾ ನಿಷ್ಠಾವಂತನು. ಇಲ್ಲಿಯ ಸಭೆಯ ಮುಂದೆ ಅವರೇ ನಿನ್ನ ಪ್ರೀತ್ಯಾದರವನ್ನು ಪ್ರಶಂಶಿಸಿದ್ದಾರೆ. ಅವರು ತಮ್ಮ ಸಂಚಾರವನ್ನು ಇನ್ನೂ ಮುಂದುವರಿಸುವಂತೆ ದೇವರು ಮೆಚ್ಚುವ ರೀತಿಯಲ್ಲಿ ನೀನು ನೆರವಾಗಬೇಕು. ಅವರು ಈ ಸಂಚಾರವನ್ನು ಕೈಗೊಂಡಿರುವುದು ಕ್ರಿಸ್ತಯೇಸುವಿನ ಸೇವೆಗಾಗಿಯೆ. ಅನ್ಯಧರ್ಮೀಯರಿಂದ ಅವರು ಯಾವ ಸಹಾಯವನ್ನೂ ಸ್ವೀಕರಿಸುವವರಲ್ಲ. ಆದ್ದರಿಂದ, ಇಂಥವರಿಗೆ ನಾವು ನೆರವಾಗಲೇಬೇಕು. ಹೀಗೆ ಸತ್ಯಕ್ಕಾಗಿ ದುಡಿಯುವವರೊಂದಿಗೆ ನಾವು ಸಹಕರಿಸಬೇಕು. 

ಕೀರ್ತನೆ: 112:1-2, 3-4, 5-6
ಶ್ಲೋಕ: ಪ್ರಭುವಿನಲಿ ಭಯಭಕ್ತಿಯುಳ್ಳವನು ಧನ್ಯನು.  

ಶುಭಸಂದೇಶ: ಲೂಕ 18:1-8


ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು: “ಒಂದು ನಗರದಲ್ಲಿ ಒಬ್ಬ ನ್ಯಾಯಾಧೀಶನಿದ್ದ. ಅವನು ದೇವರಿಗೂ ಭಯಪಡುತ್ತಿರಲಿಲ್ಲ; ಮಾನವರಿಗೂ ಲಕ್ಷ್ಯಕೊಡುತ್ತಿರಲಿಲ್ಲ. ಅದೇ ಊರಿನಲ್ಲಿ ಒಬ್ಬ ವಿಧವೆಯಿದ್ದಳು. ಅವಳು ಪದೇಪದೇ ಅವನ ಬಳಿಗೆ ಬಂದು, ‘ನನ್ನ ವಿರೋಧಿ ಅನ್ಯಾಯಮಾಡಿದ್ದಾನೆ; ನನಗೆ ನ್ಯಾಯ ದೊರಕಿಸಿಕೊಡಿ,’ ಎಂದು ಕೇಳಿಕೊಳ್ಳುತ್ತಿದ್ದಳು. ಬಹುಕಾಲ ನ್ಯಾಯಾಧೀಶನು ಅವಳಿಗೆ ಕಿವಿಗೊಡಲೇ ಇಲ್ಲ. ಕೊನೆಗೆ ಅವನು, ‘ನಾನು ದೇವರಿಗೆ ಹೆದರುವವನಲ್ಲ; ಮಾನವರಿಗೆ ಲಕ್ಷ್ಯಕೊಡುವವನೂ ಅಲ್ಲ; ಇಷ್ಟಾದರೂ ಈ ವಿಧವೆಯ ಕಾಟವನ್ನು ತಪ್ಪಿಸಿಕೊಳ್ಳಲು, ಈಕೆಯ ನ್ಯಾಯ ತೀರಿಸಿಬಿಡುತ್ತೇನೆ. ಇಲ್ಲವಾದರೆ, ಈಕೆ ಪದೇಪದೇ ಬಂದು ನನ್ನ ತಲೆಕೆಡಿಸಿಬಿಟ್ಟಾಳು,’ ಎಂದುಕೊಂಡ.” ಅನಂತರ ಪ್ರಭು ಯೇಸು, “ಈ ನೀತಿಕೆಟ್ಟ ನ್ಯಾಯಾದೀಶ ಹೇಳಿಕೊಂಡ ಮಾತುಗಳನ್ನು ಕೇಳಿದಿರಲ್ಲವೆ? ಹೀಗಿರುವಲ್ಲಿ ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲುರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯ ತೀರಿಸದೆ ಹೋಗುವರೆ? ತಡಮಾಡಿಯಾರೆ? ಶೀಘ್ರವಾಗಿ ಅವರಿಗೆ ನ್ಯಾಯ ದೊರಕಿಸಿಕೊಡುವರೆಂದು ನಿಮಗೆ ಹೇಳುತ್ತೇನೆ. ಇಷ್ಟಾದರೂ ನರಪುತ್ರನು ಬರುವಾಗ ಜಗತ್ತಿನಲ್ಲಿ ವಿಶ್ವಾಸ ಇರುವುದನ್ನು ಕಾಣುವನೋ?’ ಎಂದರು.

13.11.20 - ಯಾರು ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಇಚ್ಛಿಸುತ್ತಾನೋ ಅವನು ಅದನ್ನು ಕಳೆದುಕೊಳ್ಳುತ್ತಾನೆ; "

ಮೊದಲನೇ ವಾಚನ: 2 ಯೊಹಾನ್ನ 1:4-9

ನಿನ್ನ ಮಕ್ಕಳಲ್ಲಿ ಕೆಲವರು ಪಿತನು ವಿಧಿಸಿದಂತೆ ಸತ್ಯಸಂಧರಾಗಿ ನಡೆಯುವುದನ್ನು ಕಂಡು ನನಗಾದ ಆನಂದ ಅಷ್ಟಿಷ್ಟಲ್ಲ. ಶ್ರೀಮಾತೆಯೇ, ನಾನು ಮಾಡುವ ಬಿನ್ನಹವಿದು: ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದು ಮೊತ್ತಮೊದಲಿನಿಂದಲೂ ನಮಗೆ ಕೊಡಲಾದ ಆಜ್ಞೆಯೇ ಹೊರತು ಹೊಸದೇನೂ ಅಲ್ಲ. ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಪ್ರೀತಿ. ಪ್ರೀತಿಮಾರ್ಗದಲ್ಲಿ  ನಡೆಯಬೇಕೆಂಬುದೇ ನೀವು ಮೊತ್ತಮೊದಲಿನಿಂದಲೂ ಕೇಳಿರುವ ಆಜ್ಞೆ. ಅನೇಕ ಮಂದಿ ವಂಚಕರು ಲೋಕದಲ್ಲಿ ತಲೆದೋರಿದ್ದಾರೆ. ಯೇಸುಕ್ರಿಸ್ತರು ಮನುಷ್ಯ ಆಗಿಬಂದರೆಂಬುದನ್ನು ಇವರು ಒಪ್ಪಿಕೊಳ್ಳುವುದಿಲ್ಲ. ಇಂಥವನು ವಂಚಕನೂ ಕ್ರಿಸ್ತವಿರೋಧಿಯೂ ಹೌದು. ನಿಮ್ಮ ದುಡಿಮೆಯ ಫಲವನ್ನು ಕಳೆದುಕೊಳ್ಳದೆ ಅದನ್ನು ಪೂರ್ಣವಾಗಿ ಪಡೆಯುವಂತೆ ನೀವು ಎಚ್ಚರಿಕೆ ವಹಿಸಬೇಕು. ಕ್ರಿಸ್ತಯೇಸುವಿನ ಉಪದೇಶದಲ್ಲಿ ನೆಲೆಸದೆ ಅದರ ಎಲ್ಲೆಮೀರಿ ನಡೆಯುವವನಲ್ಲಿ ದೇವರು ಇರುವುದಿಲ್ಲ. ಆ ಉಪದೇಶದಲ್ಲಿ ನೆಲೆಸಿರುವವನಲ್ಲಿ ಪಿತ ಮತ್ತು ಪುತ್ರ ಇಬ್ಬರೂ ಇರುತ್ತಾರೆ.

ಕೀರ್ತನೆ: 119:1, 2, 10, 11, 17, 18
ಶ್ಲೋಕ: ಪ್ರಭುವಿನ ಶಾಸ್ತ್ರಾನುಸಾರ ನಡೆವವರು ಧನ್ಯರು. 

ಶುಭಸಂದೇಶ:, ಲೂಕ 17:26-37


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ನೋವನ ಕಾಲದಲ್ಲಿ ನಡೆದಂತೆಯೇ ನರಪುತ್ರನು ಬರುವ ಕಾಲದಲ್ಲೂ ನಡೆಯುವುದು. ನೋವನು ನಾವೆಯನ್ನು ಹತ್ತುವ ದಿನದ ತನಕ ಜನರು ತಿನ್ನುತ್ತಾ ಕುಡಿಯುತ್ತಾ ಇದ್ದರು; ಮದುವೆ ಮಾಡಿಕೊಳ್ಳುತ್ತಾ, ಮಾಡಿಕೊಡುತ್ತಾ ಇದ್ದರು; ಜಲಪ್ರಳಯ ಬಂದು ಎಲ್ಲರನ್ನು ನಾಶಮಾಡಿತು. ಅಂತೆಯೇ, ಲೋತನ ಕಾಲದಲ್ಲೂ ನಡೆಯಿತು. ಜನರು ಅನ್ನಪಾನೀಯಗಳಲ್ಲಿ ಆಸಕ್ತರಾಗಿದ್ದರು; ಲೇವಾದೇವಿಯಲ್ಲಿ ತೊಡಗಿದ್ದರು; ನೆಡುವುದರಲ್ಲೂ ನಿರ್ಮಿಸುವುದರಲ್ಲೂ ನಿರತರಾಗಿದ್ದರು. ಲೋತನು ಸೊದೋಮ್ ಊರನ್ನು ಬಿಟ್ಟು ತೆರಳಿದ ದಿನದಂದೇ ಆಕಾಶದಿಂದ ಅಗ್ನಿ ಮತ್ತು ಗಂಧಕದ ಮಳೆ ಸುರಿದು ಎಲ್ಲರನ್ನು ನಾಶಮಾಡಿತು. ನರಪುತ್ರನು ಪ್ರತ್ಯಕ್ಷನಾಗುವ ದಿನದಲ್ಲೂ ಹಾಗೆಯೇ ನಡೆಯುವುದು. “ಆ ದಿನದಲ್ಲಿ ಮಾಳಿಗೆಯ ಮೇಲಿರುವವನು ಮನೆಯಲ್ಲಿರುವ ಸರಕುಸಾಮಗ್ರಿಗಳನ್ನು ತೆಗೆದುಕೊಳ್ಳಲು ಕೆಳಗಿಳಿಯದಿರಲಿ. ಅಂತೆಯೇ, ಹೊಲದಲ್ಲಿರುವವನು ಮನೆಗೆ ಹಿಂದಿರುಗದಿರಲಿ. ಲೋತನ ಪತ್ನಿಗಾದ ಗತಿಯನ್ನು ನೆನಪಿಗೆ ತಂದುಕೊಳ್ಳಿರಿ! “ಯಾರು ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಇಚ್ಛಿಸುತ್ತಾನೋ ಅವನು ಅದನ್ನು ಕಳೆದುಕೊಳ್ಳುತ್ತಾನೆ; ಯಾರು ತನ್ನ ಪ್ರಾಣವನ್ನು ಕಳೆದುಕೊಳ್ಳುತ್ತಾನೋ ಅವನು ಅದನ್ನು ರಕ್ಷಿಸಿಕೊಳ್ಳುತ್ತಾನೆ. ಆ ರಾತ್ರಿ ಒಂದೇ ಹಾಸಿಗೆಯಲ್ಲಿ ಇಬ್ಬರು ಮಲಗಿದ್ದರೆ, ಆ ಇಬ್ಬರಲ್ಲಿ ಒಬ್ಬನನ್ನು ತೆಗೆದುಕೊಂಡು ಹೋಗಲಾಗುವುದು; ಒಬ್ಬನನ್ನು ಬಿಡಲಾಗುವುದು. ಒಂದೇ ಕಲ್ಲಲ್ಲಿ ಬೀಸುತ್ತಿರುವ ಇಬ್ಬರು ಮಹಿಳೆಯರಲ್ಲಿ, ಒಬ್ಬಳನ್ನು ತೆಗೆದುಕೊಂಡು ಹೋಗಲಾಗುವುದು, ಇನ್ನೊಬ್ಬಳನ್ನು ಬಿಡಲಾಗುವುದು. (ಹೊಲದಲ್ಲಿದ್ದ ಇಬ್ಬರಲ್ಲಿ ಒಬ್ಬನನ್ನು ತೆಗೆದುಕೊಂಡು ಹೋಗಲಾಗುವುದು ಮತ್ತೊಬ್ಬನನ್ನು ಬಿಡಲಾಗುವುದು)” ಎಂದರು. “ಸ್ವಾಮೀ, ಇದು ಎಲ್ಲಿ ನಡೆಯುವುದು?” ಎಂದು ಶಿಷ್ಯರು ಕೇಳಿದಾಗ, ಯೇಸು, “ಹೆಣವಿದ್ದಲ್ಲಿ ರಣಹದ್ದುಗಳು ಬಂದು ಕೂಡುವುವು,” ಎಂದರು.

12.11.20 - “ಕಾಲ ಒಂದು ಬರುವುದು, ಆಗ ನರಪುತ್ರನೊಂದಿಗೆ ಒಂದು ದಿನವನ್ನಾದರೂ ಕಳೆಯಲು ಹಂಬಲಿಸುವಿರಿ"

ಮೊದಲನೇ ವಾಚನ: ಫಿಲೇಮೊನ 1:7-20


ಸಹೋದರನೇ, ನಿನ್ನ ಪ್ರೀತಿಯನ್ನು ನೆನೆದು ನಾನು ಆನಂದವನ್ನೂ ಆದರಣೆಯನ್ನೂ ಪಡೆಯುತ್ತಿದ್ದೇನೆ. ದೇವಜನರೆಲ್ಲರ ಹೃದಯಗಳನ್ನು ನೀನು ಉಲ್ಲಾಸಪಡಿಸುತ್ತಿರುವೆ. ಆದಕಾರಣ, ನೀನು ಮಾಡಬೇಕಾದುದನ್ನು ಮಾಡು ಎಂದು ಆಜ್ಞಾಪಿಸಲು ಕ್ರಿಸ್ತಯೇಸುವಿನಲ್ಲಿ ನನಗೆ ಧೈರ್ಯ ಮತ್ತು ಅಧಿಕಾರಗಳಿವೆ. ಆದರೂ ನಿನ್ನ ಮೇಲಿರುವ ಪ್ರೀತಿಯ ನಿಮಿತ್ತ ನಾನು ನಿನ್ನಲ್ಲಿ ವಿನಂತಿಸುತ್ತೇನೆ: ವೃದ್ಧಪ್ರಾಯನೂ ಮತ್ತು ಕ್ರಿಸ್ತಯೇಸುವಿಗೋಸ್ಕರ ಈಗ ಸೆರೆಯಾಳೂ ಆಗಿರುವ ಪೌಲನೆಂಬ ನಾನು ಒನೇಸಿಮನ ಪರವಾಗಿ ನಿನ್ನಲ್ಲಿ ವಿಜ್ಞಾಪಿಸುತ್ತೇನೆ. ಇವನು ಯೇಸುವಿನಲ್ಲಿ ನನ್ನ ಸ್ವಂತ ಮಗನಂತಿದ್ದಾನೆ. ಸೆರೆಮನೆಯಲ್ಲೇ ನಾನು ಅವನನ್ನು ಆಧ್ಯಾತ್ಮಿಕವಾಗಿ ಪಡೆದೆನು. ಹಿಂದೆ ಅವನು ನಿನಗೆ ಪ್ರಯೋಜಕನಾಗಿರಲಿಲ್ಲ. ಈಗಲಾದರೋ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ. ನನಗಂತೂ ಇವನು ಪ್ರಾಣದಂತಿದ್ದರೂ ಈಗ ನಿನ್ನ ಬಳಿಗೆ ಕಳುಹಿಸುತ್ತಿದ್ದೇನೆ. ಶುಭಸಂದೇಶಕ್ಕೋಸ್ಕರ ನಾನು ಸೆರೆಮನೆಯಲ್ಲಿರುವಾಗ ನಿನ್ನ ಬದಲಾಗಿ ನನಗೆ ಸಹಾಯಮಾಡಲು ಇವನನ್ನು ಇಲ್ಲಿಯೇ ಉಳಿಸಿಕೊಳ್ಳಲು ಇಷ್ಟವಿತ್ತು. ಆದರೆ ನನಗೆ ಸಹಾಯವಾಗಲೆಂದು ನಿನ್ನನ್ನು ಖಡ್ಡಾಯಪಡಿಸಲು ನನಗಂತೂ ಇಷ್ಟವಿಲ್ಲ. ನೀನಾಗಿಯೇ ನಿನ್ನ ಸ್ವಂತ ಇಚ್ಛೆಯಿಂದ ಹಾಗೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ಆದ್ದರಿಂದ ನಿನ್ನ ಒಪ್ಪಿಗೆಯಿಲ್ಲದೆ ನಾನು ಏನನ್ನೂ ಮಾಡುತ್ತಿಲ್ಲ. ಸ್ವಲ್ಪಕಾಲ ಒನೇಸಿಮನು ನಿನ್ನಿಂದ ದೂರವಿದ್ದುದಕ್ಕೆ ಕಾರಣ ಆತನು ಸದಾಕಾಲ ನಿನ್ನವನಾಗುವುದಕ್ಕೋ ಏನೋ. ಈಗ ಅವನು ನಿನ್ನ ಬಳಿಗೆ ಬರುತ್ತಿರುವುದು ಕೇವಲ ಗುಲಾಮನಂತೆ ಅಲ್ಲ. ಅದಕ್ಕಿಂತಲೂ ಬಹಳ ಮೇಲಾದವನಂತೆ, ಕ್ರಿಸ್ತಯೇಸುವಿನಲ್ಲಿ ಪ್ರಿಯ ಸಹೋದರನಂತೆ, ಅವನೆಂದರೆ ನನಗೆಷ್ಟೋ ಪ್ರೀತಿ. ಹಾಗಾದರೆ ನಿನ್ನ ಸೇವಕನೂ ನಮ್ಮ ಪ್ರಭುವಿನಲ್ಲಿ ನಿನ್ನ ಪ್ರಿಯ ಸಹೋದರನೂ ಆಗಿರುವ ಅವನ ಬಗ್ಗೆ ನಿನಗೆ ಮತ್ತಷ್ಟು ಪ್ರೀತಿ ಇರಬೇಕಲ್ಲವೇ? ಆದ್ದರಿಂದ ಕ್ರಿಸ್ತಯೇಸುವಿನಲ್ಲಿ ನಿನಗೂ ನನಗೂ ಅನ್ಯೋನ್ಯತೆ ಇದೆಯೆಂದು ನೀನು ಪರಿಗಣಿಸುವುದಾದರೆ ನನ್ನನ್ನು ಹೇಗೆ ಸ್ವಾಗತಿಸುತ್ತಿದ್ದೆಯೋ ಹಾಗೆಯೇ ಇವನನ್ನು ಸ್ವಾಗತಿಸು. ಇವನು ನಿನಗೇನಾದರೂ ಅನ್ಯಾಯ ಮಾಡಿದ್ದಾದರೆ, ಅಥವಾ ಇವನಿಂದ ನಿನಗೇನಾದರೂ ಸಲ್ಲಬೇಕಾದ ಬಾಕಿಯಿದ್ದರೆ, ಅದೆಲ್ಲವನ್ನೂ ನನ್ನ ಲೆಕ್ಕಕ್ಕೆ ಹಾಕು. ಅದನ್ನು ಪೌಲನೆಂಬ ನಾನೇ ಕೊಟ್ಟು ತೀರಿಸುತ್ತೇನೆ ಎಂದು ನನ್ನ ಹಸ್ತಾಕ್ಷರದಲ್ಲೇ ಬರೆದುಕೊಡುತ್ತಿದ್ದೇನೆ. ಆದರೆ ಈಗ ನೀನು ಏನಾಗಿದ್ದೀಯೋ ಅದು ನನ್ನಿಂದಲೇ. ಹೀಗೆ ನೀನೇ ನನಗೆ ಸಾಲಗಾರನಾಗಿದ್ದೀ ಎಂದು ನಾನು ಹೇಳಬೇಕಾಗಿಲ್ಲ. ಹೌದು, ಪ್ರಿಯ ಸಹೋದರನೇ, ಪ್ರಭುವಿನ ಹೆಸರಿನಲ್ಲಿ ಇದೊಂದು ಉಪಕಾರವನ್ನು ನನಗೆ ಮಾಡಿಕೊಡು; ಕ್ರಿಸ್ತಯೇಸುವಿನಲ್ಲಿ ನನ್ನ ಹೃದಯ ಆನಂದಿಸುವಂತೆ ಮಾಡು.

ಕೀರ್ತನೆ: 146:7, 8-9, 9-10
ಶ್ಲೋಕ: ಇಸ್ರಯೇಲ ಕುಲದೇವರು ಯಾರಿಗೆ ಉದ್ದಾರಕನೂ ಅವನೇ ಧನ್ಯನು 

ಶುಭಸಂದೇಶ: ಲೂಕ 17:20-25


ದೇವರ ಸಾಮ್ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಕೇಳಿದಾಗ ಯೇಸುಸ್ವಾಮಿ ಪ್ರತ್ಯುತ್ತರವಾಗಿ, “ದೇವರ ಸಾಮ್ರಾಜ್ಯವು ಕಣ್ಣುಗಳಿಗೆ ಕಾಣಿಸುವಂತೆ ಬರುವುದಿಲ್ಲ. ‘ಇಗೋ, ಅದು ಇಲ್ಲಿದೆ ಅಥವಾ ಅಲ್ಲಿದೆ,’ ಎಂದು ಹೇಳುವಂತಿಲ್ಲ. ಏಕೆಂದರೆ, ದೇವರ ಸಾಮ್ರಾಜ್ಯವು ನಿಮ್ಮೊಳಗೇ ಇದೆ,” ಎಂದರು.  ಅನಂತರ ಶಿಷ್ಯರನ್ನು ಉದ್ದೇಶಿಸಿ, “ಕಾಲ ಒಂದು ಬರುವುದು, ಆಗ ನರಪುತ್ರನೊಂದಿಗೆ ಒಂದು ದಿನವನ್ನಾದರೂ ಕಳೆಯಲು ಹಂಬಲಿಸುವಿರಿ. ಆದರೆ ನಿಮಗದು ಲಭಿಸದು. ‘ಇಗೋ, ಇಲ್ಲಿದ್ದಾನೆ; ಅಗೋ ಅಲ್ಲಿದ್ದಾನೆ,’ ಎಂದು ಜನರು ಸುದ್ದಿ ಎಬ್ಬಿಸುವರು. ಅದನ್ನು ನೀವು ನೋಡಲು ಹೋಗಬೇಡಿ; ಅಂಥವರನ್ನು ಹಿಂಬಾಲಿಸಲೂ ಬೇಡಿ. ಆಕಾಶದ ಒಂದು ದಿಕ್ಕಿನಿಂದ ಇನ್ನೊಂದು ದಿಕ್ಕಿನವರೆಗೆ ಮಿನುಗಿ ಹೊಳೆಯುವ ಮಿಂಚಿನಂತೆ ನರಪುತ್ರನು ತಾನು ಬರುವ ಕಾಲದಲ್ಲಿ ಕಾಣಿಸಿಕೊಳ್ಳುವನು. ಆದರೆ ಅದಕ್ಕೆ ಮೊದಲು ಆತನು ತೀವ್ರ ಯಾತನೆಯನ್ನು ಅನುಭವಿಸಿ ಈ ಪೀಳಿಗೆಯಿಂದ ತಿರಸ್ಕೃತನಾಗಬೇಕು."ಎಂದರು. 

10.11.20 - "ನೀವು ಸಹ. ನಿಮಗೆ ವಿಧಿಸಿದ್ದನ್ನು ಮಾಡಿ ಮುಗಿಸಿದ ನಂತರ, ‘ನಾವು ಕೇವಲ ಆಳುಗಳು; ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ,’ ಎಂದುಕೊಳ್ಳಿರಿ,”

 ಮೊದಲನೇ ವಾಚನ: ತೀತನಿಗೆ 2:1-8, 11-14

ಪ್ರಿಯನೇ, ನೀನಾದರೋ ಸದ್ಬೋಧನೆಗೆ ತಕ್ಕಂತೆ ಉಪದೇಶಮಾಡು. ಮದ್ಯಾಸಕ್ತಿ ಇಲ್ಲದೆಯೂ ಗೌರವಾಸಕ್ತರಾಗಿಯೂ ಆತ್ಮಸಂಯಮಿಗಳಾಗಿಯೂ ಇರಬೇಕೆಂದು ವೃದ್ಧರಿಗೆ ಬೋಧಿಸು. ವಿಶ್ವಾಸ, ಪ್ರೀತಿ ಮತ್ತು ತಾಳ್ಮೆ ಅವರ ಮುಖ್ಯ ಗುಣಗಳಾಗಿರಬೇಕು. ಅಂತೆಯೇ, ವೃದ್ಧ ಸ್ತ್ರೀಯರು ಸಭ್ಯರಾಗಿ ವರ್ತಿಸಬೇಕು, ಅವರು ಚಾಡಿಹೇಳಬಾರದು; ಮದ್ಯಾಸಕ್ತರಾಗಿರಬಾರದು; ಸದ್ಬೋಧಕಿಯರಾಗಿರಬೇಕೆಂದು ವಿಧಿಸು. ಅವರು ನವಗೃಹಿಣಿಯರಿಗೆ, ತಮ್ಮ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವಂತೆ ಬುದ್ಧಿ ಹೇಳಬೇಕು. ಗೃಹಿಣಿಯರು, ವಿವೇಕ ಬುದ್ಧಿಯುಳ್ಳವರು, ಪತಿವ್ರತೆಯರು, ಗೃಹಕೃತ್ಯಗಳನ್ನು ಗಮನಿಸುವವರು, ಸುಶೀಲೆಯರು, ಗಂಡಂದಿರಿಗೆ ವಿಧೇಯರು ಆಗಿ ಬಾಳುವುದನ್ನು ವೃದ್ಧಸ್ತ್ರೀಯರಿಂದ ಕಲಿತುಕೊಳ್ಳಲಿ. ಹೀಗೆ, ದೇವರ ವಾಕ್ಯಕ್ಕೆ ಯಾವ ಅಪವಾದವೂ ಬಾರದಂತೆ ಅವರು ನಡೆದುಕೊಳ್ಳಲಿ. ಹಾಗೆಯೇ, ಯುವಕರು ಎಲ್ಲ ವಿಷಯಗಳಲ್ಲೂ ಜಿತೇಂದ್ರಿಯರಾಗಿರಬೇಕೆಂದು ನೀನು ಎಚ್ಚರಿಸು. ಸತ್ಕಾರ್ಯಗಳನ್ನು ಮಾಡುವುದರಲ್ಲಿ ನೀನೇ ಮಾದರಿಯಾಗಿರಬೇಕು ಎಂಬುದನ್ನು ಮರೆಯಬೇಡ. ನಿನ್ನ ಬೋಧನೆ ಯಥಾರ್ಥವೂ ಗಂಭೀರವೂ ಕಳಂಕರಹಿತವೂ ಆಗಿರಲಿ. ಆಗ ನಮ್ಮ ವಿರೋಧಿಗಳು ನಮ್ಮಲ್ಲಿ ತಪ್ಪು ಕಂಡುಹಿಡಿಯಲಾಗದೆ ತಾವೇ ಅಪಮಾನಿತರಾಗುತ್ತಾರೆ. ಎಲ್ಲಾ ಮಾನವರ ಜೀವೋದ್ಧಾರಕ್ಕಾಗಿಯೇ ದೇವರ ಅನುಗ್ರಹವು ಪ್ರಕಟವಾಗಿದೆ. ನಾವು ಭಕ್ತಿಹೀನ ನಡತೆಯನ್ನೂ ಪ್ರಾಪಂಚಿಕ ವ್ಯಾಮೋಹಗಳನ್ನೂ ವಿಸರ್ಜಿಸಿ, ಈ ಲೋಕದಲ್ಲಿ ವಿವೇಕಿಗಳಾಗಿಯೂ ಪ್ರಾಮಾಣಿಕರಾಗಿಯೂ ಭಕ್ತರಾಗಿಯೂ ಜೀವಿಸಬೇಕೆಂದು ಅದು ನಮಗೆ ಬೋಧಿಸುತ್ತದೆ. ಅಲ್ಲದೆ, ಮಹೋನ್ನತ ದೇವರು ಮತ್ತು ನಮ್ಮ ಉದ್ಧಾರಕ ಯೇಸುಕ್ರಿಸ್ತರು ಮಹಿಮಾರೂಪದಲ್ಲಿ ನಮಗೆ ಪ್ರತ್ಯಕ್ಷವಾಗುವ ಸೌಭಾಗ್ಯವನ್ನು ನಾವು ಎದುರುನೋಡಬೇಕೆಂದು ಅದು ಕಲಿಸುತ್ತದೆ. ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.

ಕೀರ್ತನೆ: 37:3-4, 18, 23, 27, 29

ಶ್ಲೋಕ: ಸಜ್ಜನರ ಜೀವೋದ್ದಾರ ಪ್ರಭುವಿನಿಂದ  

ಶುಭಸಂದೇಶ: ಲೂಕ 17:7-10


ಯೇಸುಸ್ವಾಮಿ ತಮ್ಮ ಶಿಷ್ಯರನ್ನುದ್ದೇಶಿಸಿ: “ನಿಮಗೆ ಒಬ್ಬ ಆಳಿದ್ದಾನೆಂದು ಭಾವಿಸೋಣ. ಅವನು ಹೊಲ ಉತ್ತೋ, ಕುರಿ ಮೇಯಿಸಿಯೋ ಮನೆಗೆ ಬರುತ್ತಾನೆ. ಬಂದಾಕ್ಷಣವೇ, ‘ಬಾ, ನನ್ನೊಂದಿಗೆ ಊಟಮಾಡು,’ ಎಂದು ನಿಮ್ಮಲ್ಲಿ ಯಾರಾದರೂ ಅವನಿಗೆ ಹೇಳುತ್ತಾರೆಯೇ? ಇಲ್ಲ. ಅದಕ್ಕೆ ಬದಲಾಗಿ ‘ಊಟ ಸಿದ್ಧಮಾಡು; ನಾನು ಊಟಮಾಡಿ ಮುಗಿಸುವ ತನಕ ನಡುಕಟ್ಟಿಕೊಂಡು ನನಗೆ ಉಪಚಾರಮಾಡು. ಅನಂತರ ನೀನು ಊಟಮಾಡುವೆಯಂತೆ,’ ಎಂದು ಹೇಳುತ್ತಾರಲ್ಲವೇ? ತಮ್ಮ ಆಜ್ಞೆಯ ಪ್ರಕಾರ ನಡೆದುಕೊಂಡ ಆಳಿಗೆ ಅವರು ಕೃತಜ್ಞತೆ ಸಲ್ಲಿಸುತ್ತಾರೆಯೇ? ಇಲ್ಲ. ಹಾಗೆಯೇ ನೀವು ಸಹ. ನಿಮಗೆ ವಿಧಿಸಿದ್ದನ್ನು ಮಾಡಿ ಮುಗಿಸಿದ ನಂತರ, ‘ನಾವು ಕೇವಲ ಆಳುಗಳು; ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ,’ ಎಂದುಕೊಳ್ಳಿರಿ,” ಎಂದರು.

11.11.20 - "ನಾವು ಕೇವಲ ಆಳುಗಳು; ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ,’ ಎಂದುಕೊಳ್ಳಿರಿ,” ಎಂದರು.

ಮೊದಲನೇ ವಾಚನ: ತೀತನಿಗೆ 3:1-7


ಆಳುವವರಿಗೂ ಅಧಿಕಾರಿಗಳಿಗೂ ಕ್ರೈಸ್ತವಿಶ್ವಾಸಿಗಳು ವಿಧೇಯರಾಗಿ ನಡೆದುಕೊಳ್ಳಬೇಕೆಂದು ಜ್ಞಾಪಕಪಡಿಸು. ಎಲ್ಲಾ ಸತ್ಕಾರ್ಯಗಳನ್ನು ಕೈಗೊಳ್ಳಲು ಅವರು ಸಿದ್ಧರಿರಬೇಕು. ಅವರು ಯಾರನ್ನೂ ದೂಷಿಸದೆ, ಯಾರೊಡನೆಯೂ ಜಗಳವಾಡದೆ, ಸಾಧುಗುಣದಿಂದ ಎಲ್ಲರೊಡನೆ ಸೌಜನ್ಯದಿಂದ ನಡೆದುಕೊಳ್ಳಲಿ. ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು. ಹೀಗಿರುವಾಗ, ಜಗದ್ರಕ್ಷಕರಾದ ದೇವರ ದಯೆಯೂ ಅವರ ಜನಪ್ರೇಮವೂ ಪ್ರಕಟವಾದವು.ಆಗ ಅವರೇ ನಮ್ಮನ್ನು ಉದ್ಧರಿಸಿದರು. ನಮ್ಮ ಸ್ವಂತ ಪುಣ್ಯಕಾರ್ಯಗಳು ನಮಗೆ ಈ ಉದ್ಧಾರವನ್ನು ತರಲಿಲ್ಲ. ಪುನರ್ಜನ್ಮವನ್ನು ಸೂಚಿಸುವ ಸ್ನಾನ ಹಾಗೂ ನೂತನ ಜೀವವನ್ನೀಯುವ ಪವಿತ್ರಾತ್ಮ ಈ ಮೂಲಕ ಅವರೇ ನಮ್ಮನ್ನು ಕರುಣೆಯಿಂದ ಉದ್ಧಾರಮಾಡಿದರು. ಪವಿತ್ರಾತ್ಮರನ್ನು ನಮ್ಮ ಉದ್ಧಾರಕ ಯೇಸುಕ್ರಿಸ್ತರ ಮುಖಾಂತರ ದೇವರು ನಮಗೆ ಧಾರಾಳವಾಗಿ ಅನುಗ್ರಹಿಸಿದ್ದಾರೆ. ಹೀಗೆ ದೈವಾನುಗ್ರಹದಿಂದ ನಾವು ದೇವರೊಡನೆ ಸತ್ಸಂಬಂಧವನ್ನು ಹೊಂದಿದೆವು. ನಿತ್ಯಜೀವದ ಭರವಸೆಯನ್ನು ಪಡೆದು ಆ ಜೀವಕ್ಕೆ ಬಾಧ್ಯಸ್ಥರಾದೆವು. ಇದು ಸತ್ಯವಾದ ಮಾತು. 

ಕೀರ್ತನೆ: 23:1-3, 3-4, 5, 6
ಶ್ಲೋಕ: ಪ್ರಭು ಕುರಿಗಾಹಿಯಾಗಿರಲು ನನಗೆ, ಕುಂದುಕೊರತೆಗಳೆಲ್ಲಿಯವು ಎನಗೆ? 

ಶುಭಸಂದೇಶ: ಲೂಕ 17:11-19


“ನಿಮಗೆ ಒಬ್ಬ ಆಳಿದ್ದಾನೆಂದು ಭಾವಿಸೋಣ. ಅವನು ಹೊಲ ಉತ್ತೋ, ಕುರಿ ಮೇಯಿಸಿಯೋ ಮನೆಗೆ ಬರುತ್ತಾನೆ. ಬಂದಾಕ್ಷಣವೇ, ‘ಬಾ, ನನ್ನೊಂದಿಗೆ ಊಟಮಾಡು,’ ಎಂದು ನಿಮ್ಮಲ್ಲಿ ಯಾರಾದರೂ ಅವನಿಗೆ ಹೇಳುತ್ತಾರೆಯೇ? ಇಲ್ಲ. ಅದಕ್ಕೆ ಬದಲಾಗಿ ‘ಊಟ ಸಿದ್ಧಮಾಡು; ನಾನು ಊಟಮಾಡಿ ಮುಗಿಸುವ ತನಕ ನಡುಕಟ್ಟಿಕೊಂಡು ನನಗೆ ಉಪಚಾರಮಾಡು. ಅನಂತರ ನೀನು ಊಟಮಾಡುವೆಯಂತೆ,’ ಎಂದು ಹೇಳುತ್ತಾರಲ್ಲವೇ? ತಮ್ಮ ಆಜ್ಞೆಯ ಪ್ರಕಾರ ನಡೆದುಕೊಂಡ ಆಳಿಗೆ ಅವರು ಕೃತಜ್ಞತೆ ಸಲ್ಲಿಸುತ್ತಾರೆಯೇ? ಇಲ್ಲ. ಹಾಗೆಯೇ ನೀವು ಸಹ. ನಿಮಗೆ ವಿಧಿಸಿದ್ದನ್ನು ಮಾಡಿ ಮುಗಿಸಿದ ನಂತರ, ‘ನಾವು ಕೇವಲ ಆಳುಗಳು; ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ,’ ಎಂದುಕೊಳ್ಳಿರಿ,” ಎಂದರು.

09.11.20 - “ಈ ದೇವಾಲಯವನ್ನು ಕೆಡವಿಬಿಡಿ, ಮೂರು ದಿನದಲ್ಲಿ ಅದನ್ನು ಪುನಃ ಎಬ್ಬಿಸುವೆನು,”

ಮೊದಲನೇ ವಾಚನ: ಯೆಜೆಕಿಯೇಲಾ 47:1-2, 8-9, 12

ಆಮೇಲೆ ಆ ಪುರುಷ ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದು ತಂದನು: ಇಗೋ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವದಕಡೆಗೆ ಹರಿಯುತ್ತಿತ್ತು. (ದೇವಸ್ಥಾನ ಪೂರ್ವಾಭಿಮುಖವಾಗಿತ್ತು). ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಬಲಿಪೀಠದ ದಕ್ಷಿಣದಲ್ಲಿ ಹರಿಯುತ್ತಿತ್ತು. ಆಗ ಅವನು ನನ್ನನ್ನು ಉತ್ತರ ಹೆಬ್ಬಾಗಿಲಿನಿಂದ ದೇವಾಲಯದ ಹೊರಗಿನ ಮಾರ್ಗವಾಗಿ ಸುತ್ತಿಸಿಕೊಂಡು ಪೂರ್ವದ ಹೆಬ್ಬಾಗಿಲಿಗೆ ಕರೆದುತಂದನು. ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲಮೆಲ್ಲನೆ ಹರಿಯುವ ನೀರು ಕಾಣಿಸಿತು. ಆಗ ಅವನು ನನಗೆ ಹೀಗೆ ಹೇಳಿದನು: “ಈ ಪ್ರವಾಹ ಪೂರ್ವಪ್ರಾಂತ್ಯಕ್ಕೆ ಹೊರಟು ಅರಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು; ದೇವಸ್ಥಾನದಿಂದ ಹೊರಟ ಪ್ರವಾಹವು ಲವಣಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು. ಈ ತೊರೆ ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪು ಗುಂಪಾಗಿ ಚಲಿಸುವ ಸಕಲವಿಧ ಜಲ ಜಂತುಗಳು ಬದುಕಿ ಬಾಳುವುವು; ವಿೂನುಗಳು ತಂಡೋಪ ತಂಡವಾಗಿರುವುವು. ಈ ನೀರು ಸಮುದ್ರಕ್ಕೆ ಬೀಳಲು ಆ ನೀರೂ ಸಿಹಿಯಾಗುವುದು; ಈ ತೊರೆ ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವುದು. ತೊರೆಯ ಎರಡು ದಡಗಳಲ್ಲಿಯೂ ಸಕಲ ಫಲವೃಕ್ಷಗಳು ಬೆಳೆಯುವುವು. ಅವುಗಳ ಎಲೆ ಬಾಡದು, ಹಣ್ಣು ತೀರದು. ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳು ತಿಂಗಳಲ್ಲಿಯೂ ಹೊಸ ಹೊಸ ಫಲವನ್ನು ಕೊಡುತ್ತಲಿರುವುವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಅನುಕೂಲಿಸುವುವು.”

ಕೀರ್ತನೆ: 46:3,4, 5-6, 8, 11

ಶ್ಲೋಕ: ನದಿಯೊಂದು ಆನಂದಗೊಳಿಸುವುದು ದೇವನಗರವನು ಪುನೀತಗೊಳಿಸುವುದು ಪರಾತ್ಪರನಾ ನಿವಾಸವನು 

ಎರಡನೇ ವಾಚನ: 1 ಕೊರಿಂಥಿಯಾಯರಿಗೆ 3:9-11, 16-17


ಸಹೋದರರೇ, ನಾವು ದೇವರ ಸಹಕಾರ್ಮಿಕರು. ನೀವು ದೇವರೆ ಸಾಗುವಳಿ ಮಾಡುವ ಹೊಲ; ಅವರೆ ನಿರ್ಮಿಸುತ್ತಿರುವ ಮಂದಿರ. ದೇವರು ನನಗಿತ್ತ ವರದಾನಗಳಿಗೆ ಅನುಸಾರವಾಗಿ ನಾನು ಚತುರ ಶಿಲ್ಪಿಯಂತೆ ಅಸ್ತಿವಾರ ಹಾಕಿದೆ. ಇನ್ನೊಬ್ಬನು ಅದರ ಮೇಲೆ ಕಟ್ಟುತ್ತಿದ್ದಾನೆ. ಆದರೆ ಕಟ್ಟುವ ಪ್ರತಿಯೊಬ್ಬನು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಲಿ. ಈಗಾಗಲೇ ಅಸ್ತಿವಾರ ಹಾಕಲಾಗಿದೆ. ಯೇಸುಕ್ರಿಸ್ತರೇ ಆ ಅಸ್ತಿವಾರ. ಇದಲ್ಲದೆ, ಬೇರೆ ಅಸ್ತಿವಾರವನ್ನು ಯಾರೂ ಹಾಕಲಾಗದು. ನೀವು ದೇವರ ಆಲಯವಾಗಿದ್ದೀರಿ. ದೇವರ ಆತ್ಮವು ನಿಮ್ಮಲ್ಲಿ ವಾಸಿಸುತ್ತದೆಂದು ನಿಮಗೆ ಚೆನ್ನಾಗಿ ತಿಳಿದಿದೆ. ಯಾವನಾದರೂ ದೇವಾಲಯವನ್ನು ನಾಶಮಾಡಿದರೆ ದೇವರು ಅವನನ್ನು ನಾಶಮಾಡುತ್ತಾರೆ. ದೇವರ ಆಲಯವು ಪವಿತ್ರವಾದುದು. ನೀವೇ ಆ ಆಲಯ.

ಶುಭಸಂದೇಶ: ಯೋವಾನ್ನ 2:13-22

ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿದ್ದುದರಿಂದ ಯೇಸುಸ್ವಾಮಿ ಜೆರುಸಲೇಮಿಗೆ ತೆರಳಿದರು. ಅಲ್ಲಿಯ ಮಹಾದೇವಾಲಯದಲ್ಲಿ ದನ, ಕುರಿ ಮತ್ತು ಪಾರಿವಾಳಗಳನ್ನು ಮಾರುವವರು ಮತ್ತು ನಾಣ್ಯವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿದ್ದರು. ಅದನ್ನು ಕಂಡ ಯೇಸು, ಹಗ್ಗವನ್ನು ಚಾವಟಿಯಂತೆ ಹೆಣೆದು ಅದರಿಂದ ಅವರನ್ನೆಲ್ಲಾ ದೇವಾಲಯದಿಂದ ಹೊರಗಟ್ಟಿದರು. ದನಕುರಿಗಳನ್ನು ಓಡಿಸಿದರು. ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಕೆಡವಿ, ಚಿಲ್ಲರೆ ಹಣವನ್ನು ಚೆಲ್ಲಿದರು. ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವನ್ನು ಇಲ್ಲಿಂದ ತೆಗೆದುಕೊಂಡು ಹೊರಡಿ. ನನ್ನ ಪಿತನ ಆಲಯವನ್ನು ಸಂತೆಯನ್ನಾಗಿ ಮಾಡಬೇಡಿ,” ಎಂದು ಹೇಳಿದರು. ‘ನಿನ್ನ ಆಲಯದ ಮೇಲಿನ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,’ ಎಂದು ಪವಿತ್ರಗ್ರಂಥದಲ್ಲೇ ಬರೆದಿರುವ ವಾಕ್ಯವು ಶಿಷ್ಯರಿಗೆ ಆಗ ನೆನಪಾಯಿತು. ಯೆಹೂದ್ಯರು, “ಇಷ್ಟೆಲ್ಲಾ ಮಾಡಲು ನಿನಗೆ ಅಧಿಕಾರವಿದೆ ಎಂದು ರುಜುವಾತು ಪಡಿಸುವುದಕ್ಕೆ ಯಾವ ಪವಾಡವನ್ನು ಮಾಡಿ ತೋರಿಸಬಲ್ಲೆ?” ಎಂದು ಯೇಸುವನ್ನು ಪ್ರಶ್ನಿಸಿದರು. ಅದಕ್ಕೆ ಯೇಸು, “ಈ ದೇವಾಲಯವನ್ನು ಕೆಡವಿಬಿಡಿ, ಮೂರು ದಿನದಲ್ಲಿ ಅದನ್ನು ಪುನಃ ಎಬ್ಬಿಸುವೆನು,” ಎಂದು ಉತ್ತರಕೊಟ್ಟರು. ಚಕಿತರಾದ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟಲು ನಲವತ್ತಾರು ವರ್ಷಗಳು ಹಿಡಿದಿವೆ. ನೀನು ಮೂರು ದಿನಗಳಲ್ಲೇ ಅದನ್ನು ಎಬ್ಬಿಸಬಲ್ಲೆಯಾ?” ಎಂದು ಕೇಳಿದರು. ಯೇಸು ಹೇಳಿದ್ದು ತಮ್ಮ ದೇಹವೆಂಬ ದೇಗುಲವನ್ನು ಕುರಿತು. ಅವರು ಸತ್ತು ಪುನರುತ್ಥಾನ ಹೊಂದಿದ ಬಳಿಕ ಶಿಷ್ಯರು ಅವರ ಈ ಮಾತುಗಳನ್ನು ಸ್ಮರಿಸಿಕೊಂಡರು. ಪವಿತ್ರಗ್ರಂಥದಲ್ಲೂ ಯೇಸುವಿನ ಮಾತಿನಲ್ಲೂ ಅವರಿಗೆ ಆಗ ವಿಶ್ವಾಸ ಹುಟ್ಟಿತು.

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...