17.09.21 - "ಸತ್ಸಂಬಂದ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು"

ಮೊದಲನೇ ವಾಚನ: 1ತಿಮೊಥೇಯನಿಗೆ  6:2-12

ಅತಿ ಪ್ರಿಯನೆ, ಈ ವಿಷಯಗಳ ಬಗ್ಗೆ ಆಜ್ಞಾಪೂರ್ವಕವಾಗಿ ಬೋಧಿಸು. ಯಾರಾದರೂ ನಮ್ಮ ಧಾರ್ಮಿಕ ಉಪದೇಶವನ್ನು ಅನುಸರಿಸದೆ, ಪ್ರಭು ಯೇಸುಕ್ರಿಸ್ತರ ನೈಜ ಬೋಧನೆಯನ್ನು ಒಪ್ಪಿಕೊಳ್ಳದೆ, ಭಿನ್ನ ಬೋಧನೆಯನ್ನು ಮಾಡುವುದಾದರೆ, ಅಂಥವನು ಆಹಂಭಾವಿ ಹಾಗೂ ಅಜ್ಞಾನಿಯೇ ಸರಿ. ಅಂಥವನಿಗೆ ಒಣ ವಾಗ್ವಾದಗಳಲ್ಲಿ ಮತ್ತು ಬರಡು ಮಾತುಗಳಲ್ಲಿ ಬಲು ಹಂಬಲ. ಇವುಗಳು ಅಸೂಯೆ, ಕಲಹ, ದೂಷಣೆ, ಅನುಮಾನ ಮತ್ತು ಕಚ್ಚಾಟಗಳಿಗೆ  ಎಡೆಕೊಡುತ್ತವೆ. ಮತಿಗೆಟ್ಟ ಅಂಥವರಲ್ಲಿ ಸತ್ಯವೆಂಬುದು ಇರದು. ಧಾರ್ಮಿಕ ಸೇವೆಯು ಧನಗಳಿಕೆಯ  ಸಾಧನವೆಂದೇ ಇವರ ನಂಬಿಕೆ. ಇರುವುದರಲ್ಲೇ ಸಂತೃಪ್ತನಾಗಿರುವವನು ಭಕ್ತಿಯಲ್ಲಿ ನಿಜಕ್ಕೂ ಶ್ರೀಮಂತನಾಗಿರುತ್ತಾನೆ. ಹುಟ್ಟಿದಾಗ ನಾವು ಈ ಲೋಕಕ್ಕೆ ಏನನ್ನೂ ತರಲಿಲ್ಲ; ಸಾಯುವಾಗ ಏನನ್ನೂ ಕೊಂಡೊಯ್ಯುವುದಿಲ್ಲ. ನಮಗೆ ಊಟ, ಬಟ್ಟೆ ಇದ್ದರೆ ಅಷ್ಟೇ ಸಾಕು. ಐಶ್ವರ್ಯವಂತರಾಗಬೇಕೆಂದು ಆಶಿಸುವವರು ಅನೇಕ ಪ್ರಲೋಭನೆಗಳಿಗೆ ಒಳಗಾಗುತ್ತಾರೆ. ನಿರರ್ಥಕವೂ ಹಾನಿಕರವೂ ಆದ ಆಶಾಪಾಶಾಗಳಲ್ಲಿ ಸಿಕ್ಕಿಬೀಳುತ್ತಾರೆ. ಇಂಥ ದುರಾಶೆಗಳು ಮನುಷ್ಯರನ್ನು ಕೇಡಿಗೂ  ವಿನಾಶಕ್ಕೂ ಒಯ್ಯುತ್ತವೆ. ಹಣದ ವ್ಯಾಮೋಹವೇ ಎಲ್ಲಾ ಕೇಡುಗಳಿಗೂ ಮೂಲ. ಹಣದ ವ್ಯಾಮೋಹದಿಂದಲೇ ಹಲವರು ವಿಶ್ವಾಸದಿಂದ ದೂರ ಸರಿದು, ತಮ್ಮ ಹೃದಯಗಳನ್ನು ಹಲತರದ ತಿವಿತಗಳಿಗೆ ಗುರಿಮಾಡುತ್ತಾರೆ. ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂದ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು. ನಿತ್ಯಜೀವವೆಂಬ ಬಹುಮಾನವನ್ನು ಗಳಿಸಲು ವಿಶ್ವಾಸವೆಂಬ ಪಂದ್ಯದಲ್ಲಿ ಉತ್ತಮ ಓಟಗಾರನಾಗಿ ಓಡು. ಇದಕ್ಕಾಗಿಯೇ ದೇವರು ನಿನ್ನನ್ನು ಆರಿಸಿಕೊಂಡರೆಂಬುದನ್ನು ಮರೆಯಬೇಡ. ಈ ಗುರಿಯನ್ನು ಮುಂದಿಟ್ಟುಕೊಂಡೇ ನೀನು ಅನೇಕರ ಮುಂದೆ ವಿಶ್ವಾಸಪ್ರಮಾಣ ಮಾಡಿರುವೆ.

ಕೀರ್ತನೆ: 49:6-7, 8-10, 17-18, 19-20
ಶ್ಲೋಕ: ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು

ಅವರ ಭರವಸೆ ಸಿರಿಸಂಪತ್ತಿನಲಿ I
ಅವರ ಹಿರಿಮೆ ಅಧಿಕಾಸ್ತಿಪಾಸ್ತಿಯಲಿ II
ತನ್ನನು ತಾನೇ ಮುಕ್ತಗೊಳಿಸಿಕೊಳ್ಳುವ ಜೀವಾತ್ಮನಿಲ್ಲ I
ದೇವರಿಗೆ ಈಡುಕೊಟ್ಟು ಪ್ರಾಣ ಉಳಿಸಿಕೊಳ್ಳಬಲ್ಲ ನರನಿಲ್ಲ II

ಪ್ರಾಣಕೆ ತೆರಬೇಕಾದ ಈಡು ಅಮೂಲ್ಯ I
ಅದಕೆ ಸಾಕಷ್ಟು ತೆರಲು ಯಾರಿಗೂ ಅಸಾಧ್ಯ II
ಸಮಾಧಿಗಿಳಿಯದೆ ಸದಾ ಬಾಳುವ ಬಯಕೆ I
ಮಾನವ ಶಕ್ತಿಗೆ ಮೀರಿದುದು ಆ ಗಳಿಕೆ II

ಬುದ್ಧಿಜೀವಿಗಳೂ ಸಾಯುವುದು ಖಂಡಿತ I
ಮೂರ್ಖ, ಮಂದಗತಿಗಳ ಅಳಿವೂ ನಿಶ್ಚಿತ I
ಅವರ ಸೊತ್ತು ಪರರ ಪಾಲು, ಇದೂ ಖಚಿತ II

ಸಾಯುವಾಗ ಏನನೂ ಕೊಂಡು ಹೋಗುವುದಿಲ್ಲ I
ಘನತೆ ಅವನ ಬೆನ್ನು ಹತ್ತಿ ಹೋಗುವಂತಿಲ್ಲ II
ಸಿರಿಬಂದಾಗ ಕೊರತೆಯಿರದು ಹೊಗಳಿಕೆಗೆ I
ಆತ್ಮಸ್ತುತಿ, ಮುಖಸ್ತುತಿ, ಇವುಗಳ ಮೆರೆತಕೆ II

ಸೇರದಿರನಾತ ಪಿತೃಗಳಧೋಗತಿಯನು I
ಅವಿವೇಕಿ ಕಾಣನು ಎಂದಿಗೂ ಪರಂಜ್ಯೋತಿಯನು II
ನೆಲೆಯಾಗಿರನು ಪಟ್ಟಪದವಿಯಲಿ I
ನಾಶವಾಗುವನು ಪಶುಪ್ರಾಣಿಗಳ ಪರಿ II

ಶುಭಸಂದೇಶ: ಲೂಕ 8:1-3


ಯೇಸುಸ್ವಾಮಿ ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಸಾರುತ್ತಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚಾರ ಮಾಡಿದರು. ಹನ್ನೆರಡು ಮಂದಿ ಶಿಷ್ಯರೂ ಅವರೊಡನೆ ಇದ್ದರು. ದೆವ್ವಗಳ ಕಾಟದಿಂದಲೂ ರೋಗರುಜಿನಗಳಿಂದಲೂ ಬಿಡುಗಡೆ ಹೊಂದಿದ್ದ ಕೆಲವು ಮಹಿಳೆಯರು ಅವರ ಜೊತೆಯಲ್ಲಿದ್ದರು. ಅವರಾರೆಂದರೆ: ಏಳು ದೆವ್ವಗಳಿಂದ ವಿಮುಕ್ತಳಾಗಿದ್ದ ಮಗ್ದಲದ ಮರಿಯಳು, ಹೆರೋದನ ಅರಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಪತ್ನಿ ಯೊವಾನ್ನಳು, ಅಲ್ಲದೆ ಸುಸಾನ್ನಳು, ಮತ್ತಿತರ ಅನೇಕರು. ಇವರು ತಮ್ಮ ಆಸ್ತಿಪಾಸ್ತಿಯನ್ನು ವೆಚ್ಚಮಾಡಿ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರ ಮಾಡುತ್ತಿದ್ದರು.

16.09.21 - "ನಿನ್ನ ವಿಶ್ವಾಸ ನಿನ್ನನ್ನು ಉದ್ಧಾರ ಮಾಡಿದೆ"

 ಮೊದಲನೇ ವಾಚನ: 1 ತಿಮೊಥೇಯನಿಗೆ 4:12-16



ಅತಿ ಪ್ರಿಯನೇ, ನೀನಿನ್ನೂ ಯುವಕನೆಂದು ನಿನ್ನನ್ನು ತಾತ್ಸಾರ ಮಾಡುವುದಕ್ಕೆ ಯಾರಿಗೂ ಅವಕಾಶ ಕೊಡಬೇಡ. ನಿನ್ನ ನಡೆನುಡಿ, ಪ್ರೀತಿವಿಶ್ವಾಸ ಹಾಗೂ ಪರಿಶುದ್ಧತೆಯ ವಿಷಯದಲ್ಲಿ ವಿಶ್ವಾಸಿಗಳೆಲ್ಲರಿಗೂ ನೀನೇ ಆದರ್ಶಪ್ರಾಯನಾಗಿರು. ನಾನು ಬರುವವರೆಗೂ ಪವಿತ್ರಗ್ರಂಥವನ್ನು ಪಠಿಸುವುದರಲ್ಲಿಯೂ ಪ್ರಬೋಧಿಸುವುದರಲ್ಲೂ ಉಪದೇಶಿಸುವುದರಲ್ಲೂ ಆಸಕ್ತನಾಗಿರು. ನಿನ್ನಲ್ಲಿರುವ ವರದಾನವನ್ನು ಅಲಕ್ಷಿಸಬೇಡ. ಸಭೆಯ ಹಿರಿಯರು ನಿನ್ನ ಮೇಲೆ ದೈವವಾಕ್ಯದ ಉಚ್ಚಾರದೊಂದಿಗೆ ಹಸ್ತ ನಿಕ್ಷೇಪಮಾಡಿದಾಗ ಈ ವರವು ನಿನಗೆ ಲಭಿಸಿತಲ್ಲವೇ? ನಿನ್ನ ಆಧ್ಯಾತ್ಮಿಕ ಪ್ರಗತಿ ಎಲ್ಲರಿಗೂ ಗೋಚರವಾಗುವಂತೆ ಈ ಕಾರ್ಯಸಾಧನೆಗಳಲ್ಲಿ ನಿರತನಾಗಿರು; ಇವುಗಳಲ್ಲೇ ಮಗ್ನನಾಗಿರು. ಇದರಿಃದ ನಿನ್ನ ಮತ್ತು ನಿನ್ನ ಉಪದೇಶವನ್ನು ಕೇಳುವವರ ಜೀವೋದ್ಧಾರವನ್ನು ಸಾಧಿಸುವೆ.

ಕೀರ್ತನೆ: 111:7-8, 8, 9, 10
ಶ್ಲೋಕ: ಮಹತ್ತಾದವು ಪ್ರಭುವಿನ ಕಾರ್ಯಗಳು

ನೀತಿ ಸತ್ಯತೆಯುಳ್ಳವು ಆತನ ಸತ್ಕಾರ್ಯಗಳು I
ಸುಸ್ಥಿರವಾದವು ಆತನ ನಿಯಮ ನಿಬಂಧನೆಗಳು II
ಯುಗಯುಗಾಂತರಕು ದೃಢವಾಗಿರುವುವು I
ಸತ್ಯನೀತಿಗಳು ಅವುಗಳಿಗೆ ಅಡಿಪಾಯವು II

ವಿಮೋಚನೆಯನಿತ್ತಿಹನು ಪ್ರಭು ತನ್ನ ಪ್ರಜೆಗೆ I
ಸ್ಥಿರಸ್ಥಾಪಿತವಾಗಿಹುದು ಆತನ ಒಡಂಬಡಿಕೆ I
ಪರಿಶುದ್ಧ, ಪರಮಪೂಜ್ಯ ಆತನ ನಾಮಾಂಕೆ II

ಸುಜ್ಞಾನಕ್ಕೆ ಮೂಲವು ದೈವಭಯವು I
ಅದರ ಪಾಲನೆಯು ವಿವೇಕತನವು I
ಪ್ರಭುವಿಗೆ ಸ್ತೋತ್ರ ಸದಾಕಾಲವು II

ಶುಭಸಂದೇಶ: ಲೂಕ 7:36-50


ಒಬ್ಬ ಫರಿಸಾಯನು ಯೇಸುಸ್ವಾಮಿಯನ್ನು ಊಟಕ್ಕೆ ಆಹ್ವಾನಿಸಿದನು. ಯೇಸು ಅವನ ಮನೆಗೆ ಹೋಗಿ ಊಟಕ್ಕೆ ಕುಳಿತರು.  ಅದೇ ಊರಿನಲ್ಲಿ ಪತಿತೆಯೊಬ್ಬಳು ಇದ್ದಳು, ಆಕೆ, ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕುಳಿತ್ತಿದ್ದಾರೆಂದು ಕೇಳಿ ಬಂದು ಅಮೃತಶಿಲೆಯ ಭರಣಿ ತುಂಬ ಸುಗಂಧ ತೈಲವನ್ನು ತೆಗೆದುಕೊಂಡು ಅಲ್ಲಿಗೆ ಬಂದಳು. ಅವಳು ಯೇಸುವಿನ ಹಿಂಬದಿಯಲ್ಲಿ ಅಳುತ್ತಾ ನಿಂತು, ತನ್ನ ಕಂಬನಿಯಿಂದ ಅವರ ಪಾದಗಳನ್ನು ತೊಳೆದು ತಲೆಕೂದಲಿನಿಂದ ಒರಸಿ, ಆ ಪಾದಗಳಿಗೆ ಮುತ್ತಿಟ್ಟು,  ಸುಗಂಧ ತೈಲವನ್ನು ಹಚ್ಚಿದಳು ಯೇಸುವನ್ನು ಆಹ್ವಾನಿಸಿದ ಫರಿಸಾಯನು ಇದನ್ನು ನೋಡಿ, "ಇವನು ನಿಜವಾಗಿಯೂ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿರುವ ಇವಳು ಯಾರು, ಎಂಥಾ ಪತಿತಳು ಎಂದು ತಿದುಕೊಳ್ಳುತ್ತಿದ್ದನು" ಎಂದು ತನ್ನೊಳಗೆ ಅಂದುಕೊಂಡನು. ಅದಕ್ಕೆ ಯೇಸು,  "ಒಬ್ಬ ಸಾಲಿಗನಿಗೆ ಇಬ್ಬರು ಸಾಲಗಾರರಿದ್ದರು. ಒಬ್ಬನು ಐನೂರು, ಇನ್ನೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ಅವನಿಗೆ ಸಾಲ ಕೊಡಬೇಕಾಗಿತ್ತು ಆ ಇಬ್ಬರಿಗೂ ಸಾಲ ತೀರಿಸಲು ಸಾಧ್ಯವಾಗಲಿಲ್ಲ. ಸಾಲಿಗನು ಇಬ್ಬರ ಸಾಲವನ್ನೂ ಮನ್ನ ಮಾಡಿದನು. ಈಗ ಹೇಳು, ಈ ಇಬ್ಬರಲ್ಲಿ ಯಾರಿಗೆ ಆ ಸಾಲಿಗನ ಮೇಲೆ ಹೆಚ್ಚು ಪ್ರೀತಿ?" ಎಂದು ಕೇಳಿದರು. ಅದಕ್ಕೆ ಸಿಮೋನನು, "ಯಾರು ಹೆಚ್ಚು ಸಾಲದಿಂದ ಬಿಡುಗಡೆ ಹೊಂದಿದ್ದಾನೋ ಅವನೇ ಎಂದು ತೋರುತ್ತದೆ," ಎಂದನು. "ಸರಿಯಾಗಿ ಹೇಳಿದೆ," ಎಂದರು ಯೇಸು. ಅನಂತರ ಆ ಮಹಿಳೆಯ ಕಡೆ ತಿರುಗಿ ಸಿಮೋನನಿಗೆ, "ಈಕೆಯನ್ನು ನೋಡಿದೆಯಾ ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಈಕೆಯಾದರೋ ನನ್ನ ಪಾದಗಳನ್ನು ತನ್ನ ಕಣ್ಣೀರಿನಿಂದ ತೊಳೆದು ತಲೆಗೂದಲಿನಿಂದ ಒರೆಸಿದಳು. ನೀನು ನನಗೆ ಮುತ್ತಿಟ್ಟು ಸ್ವಾಗತಿಸಲಿಲ್ಲ; ಆದರೆ ಈಕೆ ಒಳಗೆ ಬಂದಾಗಿನಿಂದ ನನ್ನ ಪಾದಗಳಿಗೆ  ಮುತ್ತಿಡುವುದನ್ನು ನಿಲ್ಲಿಸಿಲ್ಲ; ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ ಈಕೆಯೋ ನನ್ನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿರುವಳು. ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ಈಕೆ ಮಾಡಿದ ಪಾಪಗಳು ಅಪಾರವಾದರು ಅವನ್ನು ಕ್ಷಮಿಸಲಾಗಿವೆ; ಇದಕ್ಕೆ ಈಕೆ ತೋರಿಸಿರುವ ಅಧಿಕವಾದ ಪ್ರೀತಿಯೇ ಸಾಕ್ಷಿ. ಕಡಿಮೆ ಕ್ಷಮೆಪಡೆದವನು ಕಡಿಮೆ ಪ್ರೀತಿ ತೋರಿಸುತ್ತಾನೆ," ಎಂದರು. ಆನಂತರ ಯೇಸು ಆ ಮಹಿಳೆಗೆ: "ನಿನ್ನ  ಪಾಪಗಳನ್ನು ಕ್ಷಮಿಸಲಾಗಿದೆ," ಎಂದರು. ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರು ಇದನ್ನು ಕೇಳಿ, "ಪಾಪಗಳನ್ನು ಕೂಡ ಕ್ಷಮಿಸುವ ಈತ ಯಾರು?" ಎಂದು ತಮ್ಮತಮ್ಮಲ್ಲೇ ಹೇಳಿಕೊಂಡರು. ಯೇಸು ಆಕೆಗೆ, "ನಿನ್ನ ವಿಶ್ವಾಸ ನಿನ್ನನ್ನು ಉದ್ಧಾರಮಾಡಿದೆ; ಸಮಾಧಾನದಿಂದ ಹೋಗು," ಎಂದರು.

15.09.21- "ದೈವಜ್ಞಾನವೇ ನಿಜವಾದ ಜ್ಞಾನ"

 ಮೊದಲನೇ ವಾಚನ: 1ತಿಮೊಥೇಯನಿಗೆ  3:14-16


ಪ್ರಿಯ ಸಹೋದರನೇ, ನಾನು ನಿನ್ನ ಬಳಿಗೆ ಬೇಗನೆ ಬರುವೆನೆಂಬ ನಿರೀಕ್ಷೆಯಿಂದಲೇ ಈ ಪತ್ರವನ್ನು ಬರೆಯುತ್ತಿದ್ದೇನೆ.  ಒಂದು ವೇಳೆ ನಾನು ಬರುವುದು ತಡವಾದರೆ, ಹೇಗೆ ನಡೆದುಕೊಳ್ಳಬೇಕು ಎಂಬುದು ನಿನಗೆ ತಿಳಿಯಲೆಂದು ಇದನ್ನು ಬರೆದಿದ್ದೇನೆ. ಸಭೆಯು ಸತ್ಯಕ್ಕೆ ಸ್ತಂಭವೂ ಅಸ್ತಿವಾರವೂ ಆಗಿದೆ. ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಟವಾದುದ್ದು ಎಂಬುದು ನಿಸ್ಸಂದೇಹವಾದ ವಿಷಯ. "ನರಮಾನವ ರೂಪದಲ್ಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗೆ ದೇವದೂತರಿಗೆ ಪ್ರದರ್ಶಿತನಾಗಿ, ಅನ್ಯಜನರಿಗೆ ಪ್ರಬೋದಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ."

ಕೀರ್ತನೆ: 111:1-2, 3-4, 5-6
ಶ್ಲೋಕ: ಮಹತ್ತಾದವು ಪ್ರಭುವಿನ ಕಾರ್ಯಗಳು

ಶುಭಸಂದೇಶ : ಲೂಕ 7:31-35


ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ?  ಇವರು ಯಾರನ್ನು ಹೋಲುತ್ತಾರೆ? ಪೇಟೆಬೀದಿಗಳಲ್ಲಿ ಕುಳಿತು, "ನಾವು ಕೊಳಲನೂದಲು ನೀವು ಕುಣಿದಾಡಲಿಲ್ಲ; ನಾವು ಶೋಕಗೀತೆಗಳ ಹಾಡಲು ನೀವು ಕಣ್ಣೀರಿಡಲಿಲ್ಲ" ಎಂದು ಒಬ್ಬರಿಗೊಬ್ಬರು ಕೂಗಾಡುವ ಮಕ್ಕಳನ್ನು ಹೋಲುತ್ತಾರೆ. ಸ್ನಾನಿಕ ಯೊವಾನ್ನನು ಬಂದಾಗ ಅನ್ನ ಆಹಾರವನ್ನು ಸೇವಿಸಲಿಲ್ಲ, ದ್ರಾಕ್ಷಾರಸವನ್ನು ಮುಟ್ಟಲಿಲ್ಲ; ನೀವು, "ಅವನಿಗೆ ದೆವ್ವ ಹಿಡಿದಿದೆ," ಎಂದು ಹೇಳಿದಿರಿ; ನರಪುತ್ರನು ಬಂದಾಗ ಅನ್ನ ಪಾನೀಯಗಳನ್ನು ಸೇವಿಸಿದನು; ನೀವು, "ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ," ಎನ್ನುತ್ತೀರಿ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದನ್ನು ಅಂಗೀಕರಿಸುವ ಎಲ್ಲರೂ ಸಮರ್ಥಿಸುತ್ತಾರೆ," ಎಂದರು.

14.09.21 - "ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು"

 ಮೊದಲನೇ ವಾಚನ: ಸಂಖ್ಯಾಕಾಂಡ - 21:4-9



ಇಸ್ರಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ನಾಡನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಕಡಲಿನ ಮಾರ್ಗವಾಗಿ ಪ್ರಯಾಣ ಮಾಡಿದರು. ಈ ಮಾರ್ಗದ ಆಯಾಸದಿಂದವರಿಗೆ ಬೇಸರವಾಯಿತು. ಆಗ ಅವರು ದೇವರಿಗೂ ಮೋಶೆಗೂ ವಿರುದ್ಧ ಮಾತನಾಡತೊಡಗಿದರು: "ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವಿಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಗಿದೆ,", ಎಂದು ಹೇಳತೊಡಗಿದರು. ಅದಕ್ಕೆ ಸರ್ವೇಶ್ವರ ವಿಷಸರ್ಪಗಳನ್ನು ಅವರ ನಡುವೆ ಬರಮಾಡಿದರು. ಅವು ಆ ಜನರನ್ನು ಕಚ್ಚಿದವು. ಬಹು ಜನ ಸತ್ತುಹೋದರು. ಆಗ ಜನರು ಮೋಶೆಯ ಬಳಿಗೆ ಬಂದು, "ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ," ಎಂದು ಬೇಡಿಕೊಂಡರು. ಮೋಶೆ ಜನರ ಪರವಾಗಿ ಪ್ರಾರ್ಥಿಸಿದನು. ಸರ್ವೇಶ್ವರ ಅವನಿಗೆ, ನೀನು ಕಂಚಿನಿಂದ ವಿಷಸರ್ಪದ ಆಕಾರವನ್ನು ಮಾಡಿಸಿ, ಧ್ವಜ ಸ್ತಂಭದ ಮೇಲೆ ಎತ್ತಿ ನಿಲ್ಲಿಸು. ಸರ್ಪಗಳಿಂದ ಗಾಯಗೊಂಡ ಪ್ರತಿಯೊಬ್ಬನು ಅದನ್ನು ನೋಡಿ ಬದುಕಿಕೊಳ್ಳುವನು," ಎಂದು ಆಜ್ಞಾಪಿಸಿದರು. ಅಂತೆಯೇ ಮೋಶೆ ಕಂಚಿನಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜ ಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಗಾಯಗೊಂಡವರಲ್ಲಿ ಯಾರು ಯಾರು ಆ ಕಂಚಿನ  ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.

ಕೀರ್ತನೆ: 78:1-2, 34-38
ಶ್ಲೋಕ: ಮರೆಯದಿರು ಪ್ರಭುವಿನ ಮಹತ್ಕಾರ್ಯಗಳನು

ನನ್ನ ಜನರೇ, ಕಿವಿಗೊಡಿ ನನ್ನ ಬೋಧನೆಗೆ|
ಗಮನಕೊಡಿ ನಾ ಹೇಳುವ ಮಾತುಗಳಿಗೆ||
ಸಾಮತಿಯೊಂದಿಗೆ ಬೋಧನೆಯನಾರಂಭಿಸುವೆನು|
ಹೊರಪಡಿಸುವೆನು ಪೂರ್ವಕಾಲದ ಗೂಢಾರ್ಥಗಳನು||

ಆತನನು ನೆನಸಿಕೊಂಡರವರು ವಧೆಯಾಗುವಾಗ|
ಪರಿತಾಪಗೊಂಡು ದೇವರಿಗೆ ಅಭಿಮುಖರಾದಾಗ||
ನೆನೆದರಾಗ ದೇವರೇ ತಮಗಾಶ್ರಯದುರ್ಗವೆಂದು|
ಆ ಪರಾತ್ಪರ ದೇವರೇ ತಮಗೆ ಉದ್ಧಾರಕನೆಂದು||

ಆದರೆ ಅವರ ನಾಲಿಗೆಯಾಡಿತು ಅಸತ್ಯ|
ಅವರ ಬಾಯಿ ಮಾಡಿತು ಕೇವಲ ಮುಖಸ್ತುತಿಯ||
ನೆಲೆಯಾಗಿರಲಿಲ್ಲ ಅವರ ಹೃದಯ ಆತನಲಿ|
ಬದ್ದರಾಗಿರಲಿಲ್ಲ ಆತನ ನಿಬಂಧನೆಗಳಲಿ||

ಆದರೂ ಕ್ಷಮಿಸಿದನವರನು ಆ ದಯಾಳು, ನಾಶಮಾಡದೆ|
ಕೋಪವ ತಾಳಿಕೊಂಡನು, ಹಲವು ವೇಳೆ ಉದ್ರೇಕಗೊಳ್ಳದೆ||

ಎರಡನೇ ವಾಚನ: ಫಿಲಿಪ್ಪಿಯರಿಗೆ 2:6-11

ಜೀವಸ್ವರೂಪಿ ತಾನಾಗಿದ್ದರೂ ನಿರುತ ದೇವರಿಗೆ ಸಮನಾದ ಆ ಸಿರಿ ಪದವಿಯನಾತ ಹಿಡಿದಿಟ್ಟುಕೊಳ್ಳಲಿಲ್ಲ ಬಿಡಲೊಲ್ಲೆನೆನುತ. ತನ್ನನ್ನೇ ಬರಿದು ಮಾಡಿಕೊಂಡು ದಾಸನ ರೂಪವನು ಧರಿಸಿಕೊಂಡು ಮನುಜನಾಕಾರದಲಿ ಕಾಣಿಸಿಕೊಂಡು ನರಮಾನವರಿಗೆ ಸರಿಸಮನಾದ. ತನ್ನನೇ ಆತ ತಗ್ಗಿಸಿಕೊಂಡು ವಿಧೇಯನಾಗಿ ನಡೆದುಕೊಂಡು ಮರಣಪರಿಯಂತ, ಹೌದೌದು, ಶಿಲುಬೆಯ ಮರಣಪರಿಯಂತ ವಿಧೇಯನಾದ. ಎಂತಲೇ ಪರಮೋನ್ನತ ಸ್ಥಾನಕ್ಕೇರಿಸಿದನಾತನನು ಇತ್ತನು ಹೆಸರುಗಳೊಳುತ್ತಮ ಹೆಸರನು ದೇವ ಪರಮನು, ಯೇಸುವಿನ ಹೆಸರಿಗೆಂದೇ ಮೊಣಕಾಲೂರಿ ಮಣಿವರು ಸ್ವರ್ಗವಾಸಿಗಳು, ಭೂನಿವಾಸಿಗಳು, ಪಾತಾಳ ಜೀವರಾಶಿಗಳು,  "ಕ್ರಿಸ್ತ ಯೇಸುವೇ ಪ್ರಭು", ಎಂದೆಲ್ಲರಿಗೆ ಅರಿಕೆ ಮಾಡುವರು ಪಿತ ದೇವನ ಮಹಿಮೆಯನ್ನು ಈ ಪರಿ ಹೊಗಳಿ ಸಾರುವರವರು.

ಶುಭಸಂದೇಶ: ಯೊವಾನ್ನ 3:13-17



ಯೇಸು ನಿಕೊದೇಮನಿಗೆ ಇಂತೆಂದರು: "ಸ್ವರ್ಗಲೋಕದಿಂದಲೇ ಇಳಿದುಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ. ಮೋಶೆ ಮರುಭೂಮಿಯಲ್ಲಿ ಸರ್ಪವನ್ನು ಮೇಲಕ್ಕೆ ಏರಿಸಿದನು. ಅಂತೆಯೇ ನರಪುತ್ರನಲ್ಲಿ ವಿಶ್ವಾಸವಿಟ್ಟವರೆಲ್ಲರೂ ನಿತ್ಯಜೀವವನ್ನು ಪಡೆಯುವಂತೆ ನರಪುತ್ರನನ್ನು ಸಹ ಮೇಲಕ್ಕೆ ಏರಿಸಬೇಕು. ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯ ಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ. ದೇವವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿ ಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.

11.09.21 - "ನೀವು ನನ್ನನ್ನು ‘ಸ್ವಾಮೀ ಸ್ವಾಮೀ,’ ಎಂದು ಕರೆಯುತ್ತೀರಿ; ಆದರೆ ನನ್ನ ಮಾತಿನಂತೆ ನಡೆಯುವುದಿಲ್ಲವೇಕೆ?"

 ಮೊದಲನೇ ವಾಚನ : 1 ತಿಮೋಥಿ 1:15-17

ಕ್ರಿಸ್ತಯೇಸು, ಪಾಪಿಗಳ ಉದ್ಧಾರಕ್ಕಾಗಿ ಈ ಲೋಕಕ್ಕೆ ಬಂದರು ಎನ್ನುವ ಮಾತು ಸತ್ಯವಾದುದು, ನಂಬಲರ್ಹವಾದುದು ಹಾಗೂ ಎಲ್ಲರ ಅಂಗೀಕಾರಕ್ಕೆ ಯೋಗ್ಯವಾದುದು. ಅಂಥ ಪಾಪಿಗಳಲ್ಲಿ ನಾನೇ ಪ್ರಮುಖನು. 
ಇದರಿಂದಾಗಿ, ಮುಂದೆ ವಿಶ್ವಾಸಿಗಳಾಗಿ ನಿತ್ಯಜೀವ ಪಡೆಯುವವರಿಗೆ ಆದರ್ಶ ದೊರಕುವಂತೆ ಕ್ರಿಸ್ತಯೇಸು ನನಗೆ ಪೂರ್ಣ ಸಹನೆ ತೋರಿದರು. ಇದು ದೇವರ ಕರುಣೆಯೇ ಸರಿ. ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.



 ಕೀರ್ತನೆ: 113: 1-7
 ಶ್ಲೋಕ: ಪ್ರಭುವಿನ ಸಿರಿನಾಮವು ಇಂದಿಗೂ ಎಂದೆಂದಿಗೂ ಪೂಜ್ಯ

ಪ್ರಭುವಿನ ದಾಸರೇ, ಸ್ತುತಿಮಾಡಿ I
ಪ್ರಭುವಿನ ನಾಮ ಸ್ತುತಿಯನು ಮಾಡಿ II
ಪ್ರಭುವಿನ ಸಿರಿನಾಮವು ಪೂಜ್ಯ I
ಇಂದಿಗೂ ಎಂದೆಂದಿಗೂ ಪೂಜ್ಯ II

ಪ್ರಭುವಿನಾ ಸಿರಿನಾಮವು ಸ್ತುತ್ಯ I
ಪೂರ್ವ ಪಶ್ಚಿಮದವರೆಗೂ ಸ್ತುತ್ಯ II
ಸಕಲ ಜಾತಿಜನಾಂಗಗಳಲಿ ಪ್ರಭು ಶ್ರೇಷ್ಠ I
ಆತನ ಮಹಿಮೆ ಗಗನಕ್ಕಿಂತಲೂ ಉತ್ಕೃಷ್ಟ II
ನಮ್ಮ ಪ್ರಭು ದೇವನಂತೆ ಯಾರು ಸಮರ್ಥ I
ಉನ್ನತದಲಿ ಆಸನಾರೂಢನು ಆತ I
ಇಹಪರಗಳನು ವೀಕ್ಷಿಸಲಾತ ಶಕ್ತ II
ದೀನರನು ಎಬ್ಬಿಸುವನು ಧೂಳಿನಿಂದ I
ಬಡವರನು ಎತ್ತುವನು ತಿಪ್ಪೆಯಿಂದ II

ಶುಭಸಂದೇಶ: ಲೂಕ  6:43-49

ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ; ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ. 
ಪ್ರತಿಯೊಂದು ಮರದ ಗುಣವನ್ನು ಅದರ ಹಣ್ಣಿನಿಂದ ಗುರುತಿಸಬಹುದು. ಮುಳ್ಳುಗಿಡದಲ್ಲಿ ಅಂಜೂರ ಕೀಳುವಂತಿಲ್ಲ. ಮುಳ್ಳು ಕಳ್ಳಿಯಲ್ಲಿ ದ್ರಾಕ್ಷಿ ಕೊಯ್ಯುವಂತಿಲ್ಲ. ಒಳ್ಳೆಯವನು ತನ್ನ ಹೃದಯವೆಂಬ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವುದೇ ಬಾಯಿಮಾತಾಗಿ ತುಳುಕುತ್ತದೆ. “ನೀವು ನನ್ನನ್ನು ‘ಸ್ವಾಮೀ ಸ್ವಾಮೀ,’ ಎಂದು ಕರೆಯುತ್ತೀರಿ; ಆದರೆ ನನ್ನ ಮಾತಿನಂತೆ ನಡೆಯುವುದಿಲ್ಲವೇಕೆ? ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿ, ಅದರಂತೆ ನಡೆಯುವ ಪ್ರತಿಯೊಬ್ಬನೂ ಎಂಥವನಿಗೆ ಸಮಾನನೆಂದು ನಿಮಗೆ ಹೇಳುತ್ತೇನೆ ಕೇಳಿ: ಆಳವಾಗಿ ಅಡಿಪಾಯ ತೆಗೆದು, ಬಂಡೆಕಲ್ಲಿನ ಮೇಲೆ ಅಸ್ತಿವಾರ ಹಾಕಿ, ಮನೆಕಟ್ಟಿದವನಿಗೆ ಅವನು ಸಮಾನನು; ಹುಚ್ಚು ಹೊಳೆ ಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಕದಲಲಿಲ್ಲ. ಕಾರಣ - ಆ ಮನೆಯನ್ನು ಸುಭದ್ರವಾಗಿ ಕಟ್ಟಲಾಗಿತ್ತು. ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದವನು ಅಸ್ತಿವಾರವೇ ಇಲ್ಲದೆ ಬರಿಯ ಮಣ್ಣಿನ ಮೇಲೆ ಮನೆ ಕಟ್ಟಿದವನಿಗೆ ಸಮಾನನು. ಆ ಮನೆಗೆ ಪ್ರವಾಹವು ಅಪ್ಪಳಿಸಿದಾಗ ಒಡನೆಯೇ ಅದು ಕುಸಿದು ಬಿತ್ತು. ಆ ಮನೆಗೆ ಒದಗಿದ ಪತನವೋ ವಿಪರೀತ!” ಎಂದರು.

13.09.21 - "ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ"

 ಮೊದಲನೇ ವಾಚನ: 1 ತಿಮೊಥೇಯನಿಗೆ 2:1-8



ಮೊತ್ತ ಮೊದಲು ಮಾನವರೆಲ್ಲರಿಗೋಸ್ಕರ ದೇವರಿಗೆ ವಿಜ್ಞಾಪನೆ, ಪ್ರಾರ್ಥನೆ, ಬಿನ್ನಹ  ಹಾಗೂ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಬೇಕೆಂದು ಕೇಳಿಕೊಳ್ಳುತ್ತೇನೆ. ನಾವು ದೈವಭಕ್ತಿಯುಳ್ಳವರಾಗಿ ಮತ್ತು ಗೌರವಯುತವಾಗಿ ಶಾಂತಿ ಸಮಾಧಾನದಿಂದಲೂ ನೆಮ್ಮದಿಯಿಂದಲೂ ಜೀವಿಸಲು ಅನುಕೂಲವಾಗುವಂತೆ ಅರಸರಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ಪ್ರಾರ್ಥಿಸಬೇಕು. ಹೀಗೆ ಮಾಡುವುದು ಒಳ್ಳೆಯದು, ನಮ್ಮ ಉದ್ಧಾರಕರಾದ ದೇವರಿಗೆ ಮೆಚ್ಚುಗೆಯಾದುದು. ಎಲ್ಲಾ ಮಾನವರೂ ಸತ್ಯವನ್ನರಿತು ಜೀವೋದ್ಧಾರ ಪಡೆಯಬೇಕೆಂಬುದೇ ದೈವೇಚ್ಛೆ, ದೇವರು ಒಬ್ಬರೇ,  ಅವರೇ ಮಾನವರಾಗಿರುವ ಕ್ರಿಸ್ತಯೇಸು. ಇವರು ಎಲ್ಲರ ಉದ್ಧಾರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದರು. ಸರ್ವರೂ ಉದ್ಧಾರವಾಗಬೇಕೆಂಬ ದೈವೇಚ್ಛೆಗೆ ಸೂಕ್ತ ಸಮಯದಲ್ಲಿ ಸಾಕ್ಷಿ ನೀಡಿದರು.  ವಿಶ್ವಾಸ ಮತ್ತು ಸತ್ಯದ ಸಂದೇಶವನ್ನು ಸಾರುವುದಕ್ಕಾಗಿಯೇ ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಯೆಹೂದ್ಯೇತರರಿಗೆ ಬೋಧಕನನ್ನಾಗಿಯೂ ನೇಮಕಮಾಡಿದರು.  ನಾನು ಹೇಳುತ್ತಿರುವುದು ಸುಳ್ಳಲ್ಲ, ಸತ್ಯಸ್ಯ ಸತ್ಯ. ಪ್ರಾರ್ಥನೆ ಮಾಡುವ ಸ್ಥಳಗಳಲ್ಲೆಲ್ಲಾ ಪುರುಷರು ಕೋಪತಾಪವಿಲ್ಲದೆ, ಕೋಲಾಹಲವಿಲ್ಲದೆ ಕರಗಳನ್ನೆತ್ತಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಬೇಕು ಎಂಬುದೇ ನನ್ನ ಅಪೇಕ್ಷೆ.

ಕೀರ್ತನೆ: 28:2, 7, 8-9
ಶ್ಲೋಕ: ಪ್ರಭುವಿಗೆನ್ನ ಕೃತಜ್ಞತಾ ವಂದನೆ. 

ನಿನ್ನ ಪರಿಶುದ್ಧಾಲಯದತ್ತ ಕೈಯೆತ್ತಿ ಮುಗಿವೆನು I
ಕರುಣೆಯಿಂದಾಲಿಸು ಪ್ರಭು, ನನ್ನಾರ್ತ ಮನವಿಯನು II
ಪ್ರಭುವೇ ಶಕ್ತಿ, ಎನಗೆ ರಕ್ಷೆ, ಎನ್ನೆದೆಯ ನಂಬುಗೆ I
ಎನ್ನ ಮನಃಪೂರ್ವಕ ಕೀರ್ತನೆ, ಆತನಿತ್ತ ನೆರವಿಗೆ II

ಪ್ರಭುವೆ ತನ್ನ ಪ್ರಜೆಯ ಪ್ರಾಬಲ್ಯವು I
ತನ್ನಭಿಷಿಕ್ತನಿಗೆ ಆಶ್ರಯ ದುರ್ಗವು II
ರಕ್ಷಿಸು ನಿನ್ನ ಪ್ರಜೆಯನು, ಆಶೀರ್ವದಿಸು ನಿನ್ನ ಜನರನು I
ಕುರಿಗಾಹಿ ನೀನಾಗಿರು ಪ್ರಭೂ, ಹೊತ್ತು ಸಾಗಿಸು ಅವರನು II

ಶುಭಸಂದೇಶ: ಲೂಕ 7:1-10


ಜನರಿಗೆ ಮನಮುಟ್ಟುವಂತೆ ಬೋಧನೆ ಮಾಡಿದ ನಂತರ ಯೇಸುಸ್ವಾಮಿ ಕಫೆರ್ನವುಮ್ ಎಂಬ ಊರಿಗೆ ಬಂದರು. ಅಲ್ಲಿ ರೋಮ್ ಶತಾಧಿಪತಿಯೊಬ್ಬನ ನೆಚ್ಚಿನ ಸೇವಕನು ಕಾಯಿಲೆಯಿಂದ ಸಾಯುವುದರಲ್ಲಿದ್ದನು. ಶತಾಧಿಪತಿ ಯೇಸುವಿನ ವಿಷಯವನ್ನು ಕೇಳೆ ಅವರ ಬಳಿಗೆ ಯೆಹೂದ್ಯ ಪ್ರಮುಖರನ್ನು ಕಳುಹಿಸಿ, ತನ್ನ ಸೇವಕರನ್ನು ಗುಣಪಡಿಸಲು ಬರಬೇಕೆಂದು ಮನವಿ ಮಾಡಿಕೊಂಡನು. ಅವರು ಯೇಸುವಿನ ಬಳಿಗೆ ಬಂದು, "ಆ ಶತಾಧಿಪತಿ ನಿಮ್ಮ ಉಪಕಾರಕ್ಕೆ ಆರ್ಹನು. ನಮ್ಮ ಜನರ ಮೆಲೆ ಅವನಿಗೆ ಪ್ರೀತಿ ಇದೆ; ಅಲ್ಲದೆ  ನಮ್ಮ ಪ್ರಾರ್ಥನಾ ಮಂದಿರವನ್ನು ಕಟ್ಟಿಸಿಕೊಟ್ಟವನೂ ಅವನೇ," ಎಂದು ಬಹಳವಾಗಿ ವಿನಂತಿಸಿದರು. ಯೇಸು ಅವರ ಸಂಗಡವೇ ಹೊರಟರು. ಮನೆಯಿಂದ ಸ್ವಲ್ಪ ದೂರವಿರುವಾಗಲೇ ಶತಾಧಿಪತಿ ತನ್ನ ಗೆಳೆಯರ ಮುಖಾಂತರ, "ಪ್ರಭುವೇ, ಇಷ್ಟು ಶ್ರಮ ತೆಗೆದುಕೊಳ್ಳಬೇಡಿ; ತಾವು ನನ್ನ ಮನೆಗೆ ಬರುವಷ್ಟು  ಯೋಗ್ಯತೆ ನನಗಿಲ್ಲ. ನಾನೇ ತಮ್ಮಲ್ಲಿಗೆ ಬರೋಣವೆಂದರೆ ಆ ಯೋಗ್ಯತೆಯೂ ನನಗಿಲ್ಲ. ತಾವು ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು. ಏಕೆಂದರೆ, ನಾನೂ ಮತ್ತೊಬ್ಬರ ಕೈ ಕೆಳಗಿರುವವನು; ನನ್ನ ಅಧೀನದಲ್ಲೂ ಸೈನಿಕರಿದ್ದಾರೆ. ಅವರಲ್ಲಿ ಒಬ್ಬನಿಗೆ ನಾನು "ಬಾ, ಎಂದರೆ ಬರುತ್ತಾನೆ. ಇನ್ನೊಬ್ಬನಿಗೆ "ಹೋಗು," ಎಂದರೆ ಹೋಗುತ್ತಾನೆ. ಸೇವಕನಿಗೆ "ಇಂಥದ್ದನ್ನು ಮಾಡು," ಎಂದರೆ ಮಾಡುತ್ತಾನೆ," ಎಂದು ಹೇಳಿ ಕಳುಹಿಸಿದನು. ಅವನ ಈ ಮಾತುಗಳನ್ನು ಕೇಳಿದಾಗ ಯೇಸುವಿಗೆ ಆಶ್ಚರ್ಯವಾಯಿತು. ತಮ್ಮ ಹಿಂದೆ ಬರುತ್ತಿದ್ದ ಜನರ ಗುಂಪಿನ ಕಡೆ ತಿರುಗಿ ನೋಡಿ, "ಇಂಥ ಗಾಢ ವಿಶ್ವಾಸವನ್ನು  ನಾನು ಇಸ್ರಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ," ಎಂದರು. ಇತ್ತ ಶತಾಧಿಪತಿಯ ಕಡೆಯಿಂದ ಬಂದವರು ಮನೆಗೆ ಹಿಂದಿರುಗಿದಾಗ ಕಾಯಿಲೆ ಬಿದ್ದಿದ್ದ ಆ ಸೇವಕನು ಸ್ವಸ್ಥವಾಗಿದ್ದುದನ್ನು ಕಂಡರು.

12.09.21

ಮೊದಲನೇ ವಾಚನ : ಯೆಶಾಯ 50:5-9

ತೆರೆದಿಹನು ಸ್ವಾಮಿ ಸರ್ವೇಶ್ವರ ನನ್ನ ಕಿವಿಯನ್ನು ಎಂದೇ ವಿಮುಖನಾಗಲಿಲ್ಲ ನಾನು, ಪ್ರತಿಭಟಿಸಲಿಲ್ಲ ಆತನನ್ನು, ಬೆನ್ನುಕೊಟ್ಟೆನು ಹೊಡೆಯುವವನಿಗೆ ಗಡ್ಡ ಒಡ್ಡಿದೆನು ಅದನ್ನು ಕೀಳುವವರಿಗೆ ಮುಖ ಮರೆಮಾಡಲಿಲ್ಲ ಉಗುಳುಬುಗಳಿಗೆ. ನೆರವಾಗಿಹನು.ನನಗೆ ಸ್ವಾಮಿ ಸರ್ವೇಶ್ವರ ಎಂದೇ ತಲೆತಗ್ಗಿಸಲಿಲ್ಲ ನಾನು ನಾಚಿಕೆಯಿಂದ ಗಟ್ಟಿಮಾಡಿಕೊಂಡೆ ಮುಖವನ್ನು ಕಗ್ಗಲ್ಲಿನ ಹಾಗೆ ಆಶಾಬಂಗಪಡಲಾರೆನೆಂದು ಗೊತ್ತು ನನಗೆ. ನನ್ನ ಪರ ತೀರ್ಪುಕೊಡುವವನು ಇಹನು ಹತ್ತಿರದಲ್ಲೆ. ನನಗೆ ಪ್ರತಿಕಕ್ಷಿ ಯಾರೇ ಬರಲಿ ಮುಂದಕ್ಕೆ. ನನ್ನೊಡನೆ ವ್ಯಾಜ್ಯಮಾಡಬಲ್ಲವನಾರೇ ನಿಲ್ಲಲಿ ನ್ಯಾಯಕ್ಕೆ ಇಗೋ, ಸ್ವಾಮಿ ಸರ್ವೇಶ್ವರ ನಿಂತಿಹರು ನನಗೆ ನೆರವಾಗಿ ನಿರ್ಣಯಿಸುವವನು ಯಾರು ನನ್ನನ್ನು ಅಪರಾಧಿಯಾಗೀ ನುಸಿತಿಂದ ವಸ್ತ್ರದಂತೆ ಅಳಿದು ಹೋಗುವವರು ಜೀರ್ಣವಾಗಿ. 

 ಕೀರ್ತನೆ: 116:1-2, 3-4, 5-6, 8-9 
 ಶ್ಲೋಕ: ನಡೆವೆನು ನಾನು ಪ್ರಭುವಿನ ಕಣ್ಮುಂದೆ ಅಂತೆಯೇ ಬಾಳುವೆ ಜೀವಲೋಕದೊಳಿದ್ದೇ.

ನನಗಿದೆ ಪ್ರಭುವಿನಲ್ಲಿ ಪ್ರೀತಿ I
ಆಲಿಸಿಹನಾತ ನನ್ನ ವಿನಂತಿ II
ಆತನೆನ್ನ ಮೊರೆಗೆ ಕಿವಿಗೊಟ್ಟ ನಿಮಿತ್ತ I
ವಿಜ್ಞಾಪಿಸುವೆ ಜೀವಮಾನ ಪರಿಯಂತ II

ಸುತ್ತುಕೊಂಡಿದ್ದವೆನ್ನನು ಮೃತ್ಯುಪಾಶಗಳು I
ಬಿಗಿಹಿಡಿದಿದ್ದವು ಪಾತಾಳ ವೇದನೆಗಳು I
ಬಂದೊದಗಿದ್ದವೆನಗೆ ಕಷ್ಟಸಂಕಟಗಳು II

ಕೂಗಿ ಕರೆದೆನಾಗ ಪ್ರಭುವಿನ ಸಿರಿ ನಾಮವನು I
“ಪ್ರಭು, ಉಳಿಸೆನ್ನ ಪ್ರಾಣವನು” ಎಂದು ಬೇಡಿದೆನು II
ಪ್ರಭು ಕೃಪಾಳು, ನ್ಯಾಯಪ್ರಿಯನು I
ಕರುಣಾಮಯನು, ನಮ್ಮ ದೇವನು II

ಕಾಪಾಡುವನು ಪ್ರಭು ಸರಳ ಜೀವಿಗಳನು I
ರಕ್ಷಿಸಿದನು ಕುಗ್ಗಿದವನಾಗಿದ್ದ ಎನ್ನನು II
ತಪ್ಪಿಸಿಹನು ಮರಣಕೆ ನಾನೀಡಾಗದಂತೆ I
ಸಂತೈಸಿಹನು ಕಂಬನಿಯ ನಾ ಸುರಿಸದಂತೆ I

ಕಾಪಾಡಿಹನು ಕಾಲೆಡವಿ ನಾ ಬೀಳದಂತೆ II
ಎಂದೇ ನಡೆವೆನು ನಾನು ಪ್ರಭುವಿನ ಕಣ್ಮುಂದೆ I
ಅಂತೆಯೇ ಬಾಳುವೆ ಜೀವಲೋಕದೊಳಿದ್ದೇ I

ಎರಡನೇ ವಾಚನ: ಯಕೋಬ 2:14-18 

ಸಹೋದರರೇ, ಒಬ್ಬನು ತನಗೆ ವಿಶ್ವಾಸ ಇದೆಯೆಂದು ಕೊಚ್ಚಿಕೊಂಡು ಅದನ್ನು ಕಾರ್ಯತಃ ವ್ಯಕ್ತಪಡಿಸದಿದ್ದರೆ ಅದರಿಂದ ಪ್ರಯೋಜನ ಏನು? ಅಂಥ ವಿಶ್ವಾಸ ಅವನನ್ನು ಉದ್ಧಾರ ಮಾಡಬಲ್ಲುದೇ? ಒಂದು ವೇಳೆ ಒಬ್ಬ ಸಹೋದರನಾಗಲಿ, ಸಹೋದರಿಯಾಗಲಿ ದಿನನಿತ್ಯ ಊಟಬಟ್ಟೆಗಿಲ್ಲದೆ ಇರುವಾಗ, ನಿಮ್ಮಲ್ಲಿ ಯಾರಾದರೂ ಅವರಿಗೆ ಅಗತ್ಯವಾದುದನ್ನು ನೀಡದೆ, "ಹೋಗು, ಸುಖವಾಗಿ ಬಾಳು, ಚಳಿ ಕಾಯಿಸಿಕೊ, ಹೊಟ್ಟೆ ತುಂಬಾ ತಿನ್ನು," ಎಂದು ಬರೀ ಬಾಯಿಮಾತಿನಲ್ಲಿ ಉಪಚರಿಸಿದರೆ ಅದರಿಂದಾದ ಪ್ರಯೋಜನವೇನು? ಸತ್ಕ್ರಿಯೆಗಳಿಲ್ಲದ ವಿಶ್ವಾಸ ಸತ್ತ ವಿಶ್ವಾಸವೇ ಸರಿ. ಒಬ್ಬನು, "ನಿನ್ನಲ್ಲಿ ವಿಶ್ವಾಸವಿದೆ, ನನ್ನಲ್ಲಿ ಸತ್ಕ್ರಿಯೆಗಳಿವೆ" ಎನ್ನಬಹುದು. ಅಂಥವನಿಗೆ, "ಸತ್ಕ್ರಿಯೆಗಳಿಲ್ಲದ ನಿನ್ನ ವಿಶ್ವಾಸವನ್ನು ನನಗೆ ತೋರಿಸು; ನನ್ನ ಸತ್ಕಾರ್ಯಗಳ ಮೂಲಕ ನನ್ನ ವಿಶ್ವಾಸವನ್ನು ನಿನಗೆ ವ್ಯಕ್ತಪಡಿಸುತ್ತೇನೆ," ಎಂದು ಉತ್ತರಿಸಬಹುದು. 

 ಶುಭಸಂದೇಶ: ಮಾರ್ಕ  8:27-35 

ಯೇಸುಸ್ವಾಮಿ ತನ್ನ ಶಿಷ್ಯರ ಸಂಗಡ ಫಿಲಿಪ್ಪನ ಸೆಜರೇಯ ಎಂಬ ಪಟ್ಟಣದ ಪಕ್ಕದಲ್ಲಿರುವ ಹಳ್ಳಿಗಳಿಗೆ ಪ್ರಯಾಣ ಬೆಳೆಸಿದರು. ದಾರಿಯಲ್ಲಿ, "ಜನರು ನನ್ನನ್ನು ಯಾರೆಂದು ಹೇಳುತ್ತಾರೆ?" ಎಂದು ಶಿಷ್ಯರನ್ನು ಕೇಳಿದರು. ಅದಕ್ಕೆ ಶಿಷ್ಯರು, "ಕೆಲವರು ತಮ್ಮನ್ನು "ಸ್ನಾನಿಕ  ಯೊವಾನ್ನ' ಎನ್ನುತ್ತಾರೆ. ಇನ್ನು ಕೆಲವರು "ಎಲಿಯನು," ಮತ್ತೆ ಕೆಲವರು ಪ್ರವಾದಿಗಳಲ್ಲಿ ತಾವೂ ಒಬ್ಬರು ಎನ್ನುತ್ತಾರೆ," ಎಂದರು. ಆಗ ಯೇಸು, "ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?" ಎಂದು ಪ್ರಶ್ನಿಸಿದರು. ಅದಕ್ಕೆ ಪೇತ್ರನು, "ಅಭಿಷಿಕ್ತರಾದ ಲೋಕೋದ್ಧಾರಕ ತಾವೇ" ಎಂದು ಉತ್ತರವಿತ್ತನು. ಆಗ ಯೇಸು, "ಈ ವಿಷಯವನ್ನು ಯಾರಿಗೂ ತಿಳಿಸಬೇಡಿ," ಎಂದು ತಮ್ಮ ಶಿಷ್ಯರಿಗೆ ಕಟ್ಟಪ್ಪಣೆ ಮಾಡಿದರು. ಈ ಘಟನೆಯ ಬಳಿಕ ಯೇಸುಸ್ವಾಮಿ, "ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾ ಪ್ರಮುಖರಿಂದಲೂ ಪ್ರಧಾನ ಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು; ಆದರೆ ಮೂರನೇ ದಿನ ಪುನರುತ್ದಾನ ಹೊಂದುವನು," ಎಂದು ತಮ್ಮ ಶಿಷ್ಯರಿಗೆ ಮುಚ್ಚು ಮರೆಯಿಲ್ಲದೆ ಬೋಧಿಸಲಾರಂಭಿಸಿದರು. ಇದನ್ನು ಕೇಳಲಾಗದೇ  ಪೇತ್ರನು ಅವರನ್ನು ಪ್ರತ್ಯೇಕವಾಗಿ ಕರೆದು, " ನೀವು ಹೀಗೆಲ್ಲಾ ಹೇಳಬಾರದು," ಎಂದು ಪ್ರತಿಭಟಿಸಿದನು. ಆಗ ಯೇಸು ಹಿಂದಕ್ಕೆ ತಿರುಗಿ, ತಮ್ಮ ಶಿಷ್ಯರನ್ನು ನೋಡಿ, ಪೇತ್ರನನ್ನು ಗದರಿಸುತ್ತಾ, "ಸೈತಾನನೇ, ತೊಲಗು ಇಲ್ಲಿಂದ; ನಿನ್ನ ಈ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ," ಎಂದರು. ಆನಂತರ ಯೇಸುಸ್ವಾಮಿ ತಮ್ಮ ಶಿಷ್ಯರನ್ನೂ ಜನರ ಗುಂಪನ್ನೂ ಒಟ್ಟಾಗಿ ತಮ್ಮ ಬಳಿಗೆ ಕರೆದು, "ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ; ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ಹಾಗೂ ಶುಭಸಂದೇಶದ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು.

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...