08.10.21 - "ಸ್ವರ್ಗದಿಂದ ಒಂದು ಅದ್ಬುತ ಕಾರ್ಯವನ್ನು ಮಾಡಿತೋರಿಸುವಂತೆ ಕೇಳಿದರು"

 ಮೊದಲನೇ ವಾಚನ: ಯೊವೇಲ  1:13-15; 2:1-2 


ಯಾಜಕರೇ, ಗೋಣಿತಟ್ಟನ್ನುಟ್ಟು ರೋದಿಸಿರಿ; ಬಲಿಪೀಠದ ಪರಿಚಾರಕರೇ, ಪ್ರಲಾಪಿಸಿರಿ; ದೇವರ ದಾಸರೇ, ಬನ್ನಿ; ಗೋಣಿತಟ್ಟನ್ನುಟ್ಟು ಜಾಗರಣೆ ಮಾಡಿರಿ. ದೇವರ ಆಲಯದಲ್ಲಿ ಧ್ಯಾನಪಾನ ನ್ಯೆವೇದ್ಯಗಳು ನಿಂತುಹೋಗಿವೆ. ಉಪವಾಸ ವ್ರತವನ್ನು ಕೈಗೊಂಡು ಮಹಾಸಭೆಯನ್ನು ಕರೆಯಿರಿ; ಹಿರಿಯರನ್ನೂ ನಾಡಿನ ಜನಸಾಮಾನ್ಯರನ್ನೂ ಸೇರಿಸಿರಿ; ದೇವರಾದ ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬರಮಾಡಿರಿ; ಆ ಸ್ವಾಮಿಗೆ ಪ್ರಾರ್ಥನೆಮಾಡಿರಿ. ಸರ್ವೇಶ್ವರಸ್ವಾಮಿಯ ದಿನ ಸಮಿಾಪಿಸಿದೆ. ಆ ದಿನ ಸರ್ವಶಕ್ತನಿಂದ ವಿನಾಶವನ್ನು ತರಲಿದೆ; ಎಂಥಾ ಭಯಂಕರ ದಿನವದು! ಸಿಯೋನಿನಲ್ಲಿ ಕೊಂಬೂದಿರಿ; ನನ್ನ ಪರಿಶುದ್ಧ ಪರ್ವತದಲ್ಲಿ ಎಚ್ಚರಿಕೆಯ ವಾಣಿ ಮೊಳಗಲಿ; ಸಮಸ್ತ ದೇಶನಿವಾಸಿಗಳು ಹೆದರಿ ನಡುಗಲಿ, ಸರ್ವೇಶ್ವರಸ್ವಾಮಿಯ ದಿನ ಬರಲಿದೆ, ಸನ್ನಿತವಾಗಿದೆ. ಅದು ಕಾರಿರುಳಿನ ಕರಾಳ ದಿನ, ಕಾರ್ಮುಗಿಲ ಕಾರ್ಗತ್ತಲ ದಿನ. ಮುಂಬೆಳಕು ಗುಡ್ಡದಿಂದ ಗುಡ್ಡಕ್ಕೆ ಹರಡುವಂತೆ ಪ್ರಬಲವಾದ ದೊಡ್ಡ ಸೈನ್ಯವೊಂದು ಬರುತ್ತಿದೆ; ಇಂಥ ಸೈನ್ಯ ಹಿಂದೆಂದೂ ಬಂದಿಲ್ಲ, ತಲತಲಾಂತರಕ್ಕೂ ಬಬರುವಂತಿಲ್ಲ. 

ಕೀರ್ತನೆ: 9:2-3, 6, 16, 8-9 
ಶ್ಲೋಕ: ಪ್ರಭು ಜನಕೆ ನ್ಯಾಯತೀರಿಸುವನು ನೀತಿಗನುಸಾರ 

ಶುಭಸಂದೇಶ: ಲೂಕ 11:15-26 

ಜನರಲ್ಲಿ ಕೆಲವರು, "ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ," ಎಂದರು. ಬೇರೆ ಕೆಲವರು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ಸ್ವರ್ಗದಿಂದ ಒಂದು ಅದ್ಬುತ ಕಾರ್ಯವನ್ನು ಮಾಡಿತೋರಿಸುವಂತೆ ಕೇಳಿದರು. ಅವರ ಆಲೋಚನೆಗಳನ್ನು ಅರಿತುಕೊಂಡ ಯೇಸು, ಅಂತಃಕಲಹದಿಂದ ಒಡೆದು ಹೋಗಿರುವ ಪ್ರತಿಯೊಂದು ರಾಜ್ಯ ನಾಶವಾಗುವುದು; ಕುಟುಂಬ ಕುಟುಂಬಗಳು ಕಚ್ಚಾಡಿ ಹಾಳಾಗುವುವು. ಅಂತೆಯೇ ಸೈತಾನನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯ ಹೇಗೆ ತಾನೆ ಉಳಿದೀತು? ನಾನು ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಶಕ್ತಿಯಿಂದ ಬಿಡಿಸುತ್ತಾರೆ? ಆದ್ದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು. ನಾನು ದೇವರ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ದೇವರ ಸಾಮ್ರಾಜ್ಯ ನಿಮ್ಮಲ್ಲಿಗೆ ಈಗಾಗಲೇ ಬಂದಿದೆ, ಎಂಬುದು ಸ್ಪಷ್ಟ. ಬಲಿಷ್ಠನೊಬ್ಬನು ಸರ್ವಾಯುಧಗಳಿಂದ ಸುಸಜ್ಜಿತನಾಗಿ ತನ್ನ ಮನೆಗೆ ಕಾವಲಿರಿಸುವಾಗ ಅವನ ಆಸ್ತಿಯೆಲ್ಲ ಸುರಕ್ಷಿತವಾಗಿರುತ್ತದೆ. ಆದರೆ ಇವನಿಗಿಂತಲೂ ಬಲಿಷ್ಠನು ಎದುರಿಸಿ ಬಂದು ಇವನನ್ನು ಗೆದ್ದಾಗ, ಇವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಯನ್ನು ಹಂಚಿಕೊಡುತ್ತಾನೆ. ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನೊಡನೆ ಶೇಕರಿಸದವನು ಚದುರಿಸುತ್ತಾನೆ," ಎಂದರು. ಯೇಸುಸ್ವಾಮಿ ಬೋಧನೆಯನ್ನು ಮುಂದುವರಿಸುತ್ತಾ, "ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ತೊಲಗಿದ ಮೇಲೆ ನೆಲೆಯನ್ನು ಹುಡುಕುತ್ತಾ ಒಣಗಾಡಿನಲ್ಲಿ ಅಲೆದಾಡುತ್ತದೆ. ಅದಕ್ಕೆ ನೆಲೆ ಸಿಗದ ಕಾರಣ ಅದು, "ನಾನು ಬಿಟ್ಟುಬಂದ ನನ್ನ ಮನೆಗೇ ಹಿಂದಿರುಗುತ್ತೇನೆ" ಎಂದುಕೊಳ್ಳುತ್ತದೆ. ಅದು ಮರಳಿ ಬಂದಾಗ, ಮನೆ ಗುಡಿಸಿರುವುದನ್ನೂ ಎಲ್ಲವೂ ಚೊಕಟವಾಗಿರುವುದನ್ನೂ ಕಾಣುತ್ತದೆ. ಪುನಃ ಹೊರಟು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳ ಹೊಕ್ಕು ನೆಲಸುತ್ತದೆ. ಕೊನೆಗೆ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗೆ ಇಳಿಯುತ್ತದೆ," ಎಂದರು.

07.10.21 - "ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು"

 ಮೊದಲನೇ ವಾಚನ: ಮಲಾಕಿಯನ 3:13-4:2 


"ನೀವು ನನಗೆ ಕಠಿಣವಾದ ಮಾತುಗಳನ್ನಾಡಿದ್ದೀರಿ," ಎನ್ನುತ್ತಾರೆ ಸರ್ವೇಶ್ವರ. "ನೀವು, "ನಿನಗೆ ವಿರುದ್ಧವಾಗಿ ನಾವು ಮಾತನಾಡಿದ್ದೇನು?" ಎಂದು ಕೇಳುತ್ತೀರೋ? ದೇವರಿಗೆ ಸೇವೆ ಮಾಡುವುದು  ವ್ಯರ್ಥ. ಅವರು ಹೇಳಿದಂತೆ ನಾವು ನಡೆದುಕೊಳ್ಳುವುದರಿಂದ ಪ್ರಯೋಜನವೇನು? ನಮ್ಮ ಕೃತ್ಯಗಳಿಗಾಗಿ ಸೇನಾಧೀಶ್ವರ ಸರ್ವೇಶ್ವರನ ಮುಂದೆ ದುಃಖಪಡುವುದರಿಂದ ಲಾಭವೇನು? ಆಹಂಕಾರಿಗಳೇ ಭಾಗ್ಯವಂತರು; ದುಷ್ಕರ್ಮಿಗಳು ಚೆನ್ನಾಗಿ ಅಭಿವೃದ್ಧಿಯಾಗುತ್ತಿದ್ದಾರೆ, ಅಷ್ಟೆ ಅಲ್ಲ, ದೇವರನ್ನೇ ಪರಿಕ್ಷೆಗೆ ಗುರಿಪಡಿಸಿ ಸುರಕ್ಷಿತವಾಗಿದ್ದಾರೆ," ಎಂದು ನೀವು ಹೇಳಿದ್ದೀರಿ. ಇಂಥ ಮಾತುಗಳನ್ನು ಕೇಳಿ, ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಸರ್ವೇಶ್ವರ ಅವರಿಗೆ ಕಿವಿಗೊಟ್ಟು ಆಲಿಸಿದರು. ಭಯಭಕ್ತಿಯಿಂದ ತಮ್ಮ ನಾಮ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತಮ್ಮ ಮುಂದಿದ್ಧ ದಾಖಲೆ ಪುಸ್ತಕದಲ್ಲಿ ಬರೆಸಿದರು. ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: "ಇವರು ನನ್ನ ಜನರು; ನಾನು ಕಾರ್ಯತತ್ಪರನಾಗುವ ದಿನದಂದು ಅವರು ನನಗೆ ಸ್ವಕೀಯ ಜನರಾಗಿರುವರು.  ತಂದೆಯೊಬ್ಬನು ತನ್ನ ಸೇವೆ ಮಾಡುವ ಮಗನನ್ನು ಕಾಪಾಡುವಂತೆ ನಾನು ಅವರನ್ನು ಕಾಪಾಡುವೆನು. ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ. "ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ.  ಎಲ್ಲ ಆಹಾಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ," ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ, "ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ. 

ಕೀರ್ತನೆ: 1:1-2, 3, 4, 6 
ಶ್ಲೋಕ: ಪ್ರಭುವಿನಲ್ಲೇ ಭರವಸೆಯಿಟ್ಟು ನಡೆವಾತನು ಧನ್ಯನು 

ಶುಭಸಂದೇಶ: ಲೂಕ 11:5-13 

ಯೇಸುಸ್ವಾಮಿ ಶಿಷ್ಯರಿಗೆ ಹೀಗೆಂದರು: "ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ: ಅವನು, "ಗೆಳೆಯಾ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು. ಪ್ರಯಾಣದಲ್ಲಿದ್ದ ನನ್ನ ಸ್ನೇಹಿತನೊಬ್ಬನು ಅನಿರೀಕ್ಷಿತವಾಗಿ ನನ್ನ ಮನೆಗೆ ಈಗತಾನೆ ಬಂದಿದ್ದಾನೆ. ಅವನಿಗೆ ಊಟಕ್ಕಿಡಲು ನನ್ನಲ್ಲಿ ಏನೂ ಇಲ್ಲ," ಎಂದು ಕೇಳಲು, ಈ ಸ್ನೇಹಿತ ಒಳಗಿನಿಂದಲೇ, "ನನಗೆ ತೊಂದರೆ ಕೊಡಬೇಡ; ಬಾಗಿಲು ಹಾಕಿ ಆಗಿದೆ; ನನ್ನ ಮಕ್ಕಳು ನನ್ನ ಕೂಡ ಮಲಗಿದ್ದಾರೆ; ನಾನು ಎದ್ದು ಬಂದು ಕೊಡುವುದಕ್ಕಾಗುವುದಿಲ್ಲ," ಎಂದು ಉತ್ತರ ಕೊಡುವುದು ಸಹಜವಲ್ಲವೇ? ಆದರೂ, ತನ್ನ ಗೆಳೆಯ ಇವನು ಎದ್ದು ಬಂದುಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದು ಬಂದು ಕೇಳಿದಷ್ಟನ್ನು ಕೊಡುತ್ತಾನೆಂಬುದು ನಿಜ. ಆದುದರಿಂದ "ಕೇಳಿರಿ, ನಿಮಗೆ ದೊರಕುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು. ಏಕೆಂದರೆ ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ದೊರಕುವುದು; ಹುಡುಕುವವನಿಗೆ ಸಿಗುವುದು; ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು. ನಿಮ್ಮಲ್ಲಿ ಯಾವ ತಂದೆ ತಾನೇ ತನ್ನ ಮಗ ಮಿಾನನ್ನು  ಕೇಳಿದರೆ ಹಾವನ್ನು ಕೊಡುತ್ತಾನೆ? ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುತ್ತಾನೆ? ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ."

06.10.21 - "ನಿಮ್ಮ ಸಾಮ್ರಾಜ್ಯ ಬರಲಿ"

 ಮೊದಲನೇ ವಾಚನ: ಯೋನನ 4:1-11 



ಸರ್ವೇಶ್ವರಸ್ವಾಮಿಯ ವರ್ತನೆಯು ಯೋನನಿಗೆ ಹಿಡಿಸಲಿಲ್ಲ. ಅವನ ಕೋಪ ನೆತ್ತಿಗೇರಿತು. ಆಗ ಅವನು ಹೀಗೆಂದು ಮೊರೆಯಿಟ್ಟನು: "ಸ್ವಾಮಿಾ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೇನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರಯತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು. ಆದುದರಿಂದ ಸರ್ವೇಶ್ವರಾ, ನನ್ನ ಪ್ರಾಣವನ್ನು ಹಿಂತೆಗೆದುಕೊಳ್ಳಿ. ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು." ಎಂದು ಮೊರೆಯಿಟ್ಟನು. ಅದಕ್ಕೆ ಸರ್ವೇಶ್ವರ, "ನೀನು ಹೀಗೆ ಸಿಟ್ಟುಗೊಳ್ಳುವುದು ಸರಿಯೇ?" ಎಂದರು. ಅನಂತರ ಯೋನನು ಆ ನಗರವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋದನು. ಅಲ್ಲಿ ತನಗಾಗಿ ಒಂದು ಗುಡಿಸಲನ್ನು ಕಟ್ಟಿಕೊಂಡನು. ನಗರಕ್ಕೆ ಏನು ಸಂಭವಿಸುತ್ತದೋ ಎಂಬುದನ್ನು ನೋಡಲು ಅದರ ನೆರಳಿನಲ್ಲಿ ಕುಳಿತನು. ದೇವರಾದ ಸರ್ವೇಶ್ವರ ಆ ಸ್ಥಳದಲ್ಲಿ ಒಂದು ಸೋರೆಬಳ್ಳಿ ಮೊಳೆಯುವಂತೆ ಮಾಡಿದರು. ಅದು ಬೆಳೆದು ತಲೆಗೆ ನೆರಳನ್ನೂ ಮನಸ್ಸಿಗೆ ತಣಿವನ್ನೂ ನೀಡಿತು. ಯೋನನಿಗೆ ಬಹಳ ಸಂತೋಷವಾಯಿತು. ಆದರೆ ಮಾರನೆಯ ದಿನ ಮುಂಜಾನೆ ದೇವರ ಆಜ್ಞಾನುಸಾರ ಆ ಗಿಡಕ್ಕೆ ಹುಳುವೊಂದು ಹೊಡೆಯಿತು. ಆಗ ಗಿಡವು ಒಣಗಿಹೋಯಿತು. ಸೂರ್ಯನು ಏರುತ್ತಿರಲು, ಸರ್ವೇಶ್ವರನ ಚಿತ್ತಾನುಸಾರ ಬಿಸಿಯಾದ ಮೂಡಣ ಗಾಳಿ ಬೀಸಿತು. ಬಿಸಿಲಿನ ತಾಪದಿಂದ ಯೋನನು ಮೂರ್ಛೆಹೋಗುವಂತಾದನು; ಸಾವನ್ನು ಅಪೇಕ್ಷಿಸುತ್ತಾ: "ಬದುಕಿರುವುದಕ್ಕಿಂತ ಸಾಯುವುದೇ ಲೇಸು," ಎಂದು ಬೇಡಿಕೊಂಡನು. ಅದಕ್ಕೆ ದೇವರು: "ನೀನು ಸೋರೆಗಿಡದ ವಿಷಯದಲ್ಲಿ ಸಿಟ್ಟುಗೊಳ್ಳುವುದು  ಸರಿಯೇ?" ಎಂದು ಕೇಳಲು, ಯೋನನು, "ಹೌದು, ಸಾವನ್ನು ಬಯಸುವಷ್ಟು ಸಿಟ್ಟುಗೊಳ್ಳುವುದು ಸರಿಯಲ್ಲವೇ?" ಎಂದು ಉತ್ತರವಿತ್ತನು. ಆಗ ಸರ್ವೇಶ್ವರ: "ನೀನು ಆ ಗಿಡಕ್ಕಾಗಿ ಶ್ರಮಿಸಲೂ ಇಲ್ಲ, ಅದನ್ನು ಬೆಳೆಸಲೂ ಇಲ್ಲ ಅದು ತಾನಾಗಿಯೇ ಒಂದು ರಾತ್ರಿಯಲ್ಲಿ ಬೆಳೆಯಿತು. ಒಂದೇ ರಾತ್ರಿಯಲ್ಲಿ ಬಾಡಿಹೋಯಿತು. ಅದಕ್ಕಾಗಿ ಇಷ್ಟೊಂದು ಚಿಂತೆಯೇ? ಹೀಗಿರುವಲ್ಲಿ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಹೆಚ್ಚು ಮಂದಿ ನಿರಪರಾಧಿಗಳೂ ಅಪಾರ ಪಶುಪ್ರಾಣಿಗಳೂ ಇರುವ ನಿನೆವೆ ಮಹಾನಗರದ ಬಗ್ಗೆ ನಾನು ಇನ್ನೆಷ್ಟು ಚಿಂತೆಮಾಡಬೇಕು?" ಎಂದರು. 

ಕೀರ್ತನೆ: 86:3-4, 5-6,  9--10 

ಶ್ಲೋಕ: ಪ್ರಭೂ, ನೀ ದಯಾಳು; ದೇವಾ, ನೀ ಕರುಣಾಮೂರ್ತಿ 

ಶುಭಸಂದೇಶ: ಲೂಕ  11:1-4 

ಒಮ್ಮೆ ಯೇಸುಸ್ವಾಮಿ ಒಂದು ಸ್ಥಳದಲ್ಲಿ ಪ್ರಾರ್ಥನೆಮಾಡುತ್ತಾ ಇದ್ದರು. ಅವರ ಪ್ರಾರ್ಥನೆ ಮುಗಿದ ಮೇಲೆ ಶಿಷ್ಯರಲ್ಲಿ ಒಬ್ಬನು, "ಪ್ರಭುವೇ ಯೊವಾನ್ನನು ತನ್ನ ಶಿಷ್ಯರಿಗೆ  ಪ್ರಾರ್ಥನೆ ಮಾಡುವುದನ್ನು ಕಲಿಸಿದ ಹಾಗೆ ನಮಗೂ ಕಲಿಸಿಕೊಡಿ," ಎಂದನು. ಅದಕ್ಕೆ ಯೇಸು ಇಂತೆಂದರು: "ನೀವು ಹೀಗೆ ಪ್ರಾರ್ಥನೆಮಾಡಬೇಕು: "ತಂದೆಯೇ, ನಿಮ್ಮ ಪವಿತ್ರನಾಮ ಪೂಜಿತವಾಗಲಿ: ನಿಮ್ಮ ಸಾಮ್ರಾಜ್ಯ ಬರಲಿ. ನಮಗೆ ಅಗತ್ಯವಾದ ಆಹಾರವನ್ನು ಅನುದಿನವೂ ಕೊಡಿ. ನಮಗೆ ತಪ್ಪು ಮಾಡಿದ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ, ನಮ್ಮ ಪಾಪಗಳನ್ನು ಕ್ಷಮಿಸಿರಿ. ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ."

05.10.21

 ಮೊದಲನೇ ವಾಚನ: ಯೋನನ 3:1-10 



ಯೋನನಿಗೆ ಸ್ವಾಮಿಯ ವಾಣಿ ಪುನಃ ಕೇಳಿಸಿತು: "ಎದ್ದು ಮಹಾನಗರವಾದ ನಿನೆವೆಗೆ ಹೋಗು, ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿಗಳಿಗೆ ಸಾರು," ಎಂದಿತು. ಸ್ವಾಮಿಯ ಆಜ್ಞಾನುಸಾರ ಯೋನನು ನಿನೆವೆಗೆ ಹೋದನು. ಅದೊಂದು ವಿಸ್ತಾರವಾದ ನಗರ. ಅದನ್ನು ಹಾದುಹೋಗಲು ಮೂರು ದಿನಗಳು ಹಿಡಿಯುತ್ತಿತ್ತು. ನಗರವನ್ನು ಪ್ರವೇಶಿಸಿ ಒಂದು ದಿನದ ಪ್ರಯಾಣಮಾಡಿದ ನಂತರ ಯೋನನು ಸ್ವಾಮಿಯ ಸಂದೇಶವನ್ನು ಸಾರುತ್ತಾ, "ಜನರೇ ಕೇಳಿ; ನಿಮ್ಮ ನಗರ ನಲವತ್ತು ದಿನಗಳಲ್ಲಿ ನಾಶವಾಗುವುದು," ಎಂದನು. ಆ ನಗರದ ನಿವಾಸಿಗಳು ದೇವರ ಸಂದೇಶವನ್ನು ನಂಬಿದರು. ಪ್ರತಿಯೊಬ್ಬನೂ ಉಪವಾಸ ಕೈಗೊಳ್ಳಬೇಕೆಂದು ನಿರ್ಧರಿಸಿದರು. ಹಿರಿಯರು ಮೊದಲುಗೊಂಡು ಕಿರಿಯರವರೆಗೆ - ಎಲ್ಲರೂ ಮನಪರಿವರ್ತನೆ ಚಿಹ್ನೆಯಾಗಿ ಗೋಣಿತಟ್ಟನ್ನು  ಉಟ್ಟುಕೊಂಡರು ಈ ಸಂಗತಿ ನಿನೆವೆಯ ಅರಸನ ಕಿವಿಗೆ ಬಿದ್ದಿತು. ಅವನು ಸಿಂಹಾಸನದಿಂದ ಇಳಿದು, ತನ್ನ ರಾಜವಸ್ತ್ರಗಳನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಕುಳಿತುಕೊಂಡನು. ಕೂಡಲೇ ತನ್ನ ಪ್ರಜೆಗಳಿಗೆಈ ರಾಜಾಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿದನು: "ಅರಸನ ಹಾಗೂ ಆತನ ಆಪ್ತ ಪ್ರಮುಖರ ಆಜ್ಞೆಯಿದು: ಜನರಾಗಲೀ ದನಕರುಗಳಾಗಲೀ, ಕುರಿಮೇಕೆಗಳಾಗಲೀ, ಯಾರೂ ಏನನ್ನೂ ತಿನ್ನಬಾರದು, ಕುಡಿಯಲೂಬಾರದು. ಎಲ್ಲ ಜನರೂ ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು: ಪ್ರಾಣಿಗಳಿಗೂ ಹೊದಿಸಬೇಕು. ದೇವರನ್ನು ಶ್ರದ್ಧೆಯಿಂದ ಪ್ರಾರ್ಥಿಸಬೇಕು. ಎಲ್ಲರೂ ದೌರ್ಜನ್ಯವನ್ನು ತ್ಯಜಿಸಿ, ಹಿಂಸಾಚಾರವನ್ನು ಕೈಬಿಡಬೇಕು. ಹೀಗೆ ಮಾಡಿದ್ದೇ. ಆದರೆ, ದೇವರು ಒಂದುವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ತಮ್ಮ ಉಗ್ರಕೋಪವನ್ನು ತಡೆದಾರು, ನಾವು ನಾಶವಾಗದೆ ಉಳಿದೇವು." ಆ ಜನರು ಮಾಡಿದುದೆಲ್ಲವನ್ನು ದೇವರು ಗಮನಿಸಿದರು. ತಮ್ಮ ದುರ್ನಡತೆಯನ್ನು ಜನರು ಕೈಬಿಟ್ಟದ್ದನ್ನು ಕಂಡು, ಮನಮರುಗಿ ಅವರಿಗೆ ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ತಡೆಹಿಡಿದರು. 

ಕೀರ್ತನೆ: 130:1-2, 3-4, 7-8 

ಶ್ಲೋಕ: ಪಾಪಗಳ ನೀ ಪಟ್ಟಿಮಾಡಿದೆಯಾದರೆ ಪ್ರಭೂ ನಿನ್ನ ಮುಂದೆ ಯಾರು ತಾನೆ ನಿಲ್ಲಬಲ್ಲರು ವಿಭೂ? 

ಶುಭಸಂದೇಶ: ಲೂಕ 10:38-42 


ಯೇಸುಸ್ವಾಮಿ ತಮ್ಮ ಶಿಷ್ಯರೊಡನೆ ಪ್ರಯಾಣ ಮುಂದುವರಿಸಿ ಒಂದು ಹಳ್ಳಿಗೆ ಬಂದರು. ಅಲ್ಲಿ ಮಾರ್ತಳೆಂಬ ಮಹಿಳೆ ಅವರನ್ನು ತಮ್ಮ ಮನೆಗೆ ಅಮಂತ್ರಿಸಿದಳು. ಆಕೆಗೆ ಮರಿಯಳೆಂಬ ಸೋದರಿ ಇದ್ದಳು. ಈಕೆ ಪ್ರಭುವಿನ ಪಾದದ ಬಳಿ ಕುಳಿತುಕೊಂಡು ಅವರ ಬೋಧನೆಯನ್ನು ಆಲಿಸುತ್ತಿದ್ದಳು. ಮಾರ್ತಳಾದರೋ, ಅತಿಥಿಸತ್ಕಾರದ ಗಡಿಬಿಡಿಯಲ್ಲಿ ಇದ್ದಳು. ಅವಳು ಬಂದು, "ಪ್ರಭೂ, ನನ್ನ ಸೋದರಿ ಈ ಕೆಲಸವನ್ನೆಲ್ಲಾ ನನ್ನೊಬ್ಬಳಿಗೇ ಬಿಟ್ಟಿದ್ದಾಳೆ. ನೀವಿದನ್ನು ಗಮನಿಸಬಾರದೇ? ನನಗೆ ಸಹಾಯ ಮಾಡುವಂತೆ ಅವಳಿಗೆ ಹೇಳಿ," ಎಂದಳು. ಯೇಸು ಆಕೆಗೆ ಪ್ರತ್ಯುತ್ತರವಾಗಿ, "ಮಾರ್ತಾ, ಮಾರ್ತಾ, ನೀನು ಅನಾವಶ್ಯ ಚಿಂತೆ ಪೇಚಾಟಗಳಿಗೆ ಒಳಗಾಗಿರುವೆ. ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು," ಎಂದರು.

04.10.21 - " ನನ್ನ ನೆರೆಯವನು ಯಾರು?"

ಮೊದಲನೆಯ ವಾಚನ: ಯೋನ 1:1-17, 2:10


ಒಂದು ದಿನ ಅಮಿತ್ತಾಯನ ಮಗನಾದ ಯೋನನಿಗೆ ಸರ್ವೇಶ್ವರರಸ್ವಾಮಿಯ ವಾಣಿ ಕೇಳಿಸಿತು. " ನಿನೆವೆ ಮಹಾನಗರದ ನಿವಾಸಿಗಳು ಎಷ್ಟು ದುಷ್ಟರೆಂಬುದು ನನಗೆ ತಿಳಿದುಬಂದಿದೆ. ನೀನು ಅಲ್ಲಿಗೆ ಹೋಗು. ಅವರನ್ನು ಕಟುವಾಗಿ ಖಂಡಿಸು, " ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರ ಹೋಗಬಹುದೆಂದು ಭಾವಿಸಿದನು. ಆದರೆ ಸರ್ವೇಶ್ವರ ಸಮುದ್ರದಲ್ಲಿ ಬಿರುಗಾಳಿಯೊಂದನ್ನು ಬರಮಾಡಿದರು. ಅಲೆಗಳ ಹೊಡೆತಕ್ಕೆ ಹಡಗು ನುಚ್ಚುನೂರಾಗಿ ಒಡೆದುಹೋಗುವುದರಲ್ಲಿತ್ತು. ದಿಗ್ಭ್ರಾಂತರಾದ ನಾವಿಕರು ಪ್ರಾಣ ರಕ್ಷಣೆಗಾಗಿ ತಮ್ಮ ದೇವದೇತೆಗಳ ಮೊರೆಹೊಕ್ಕರು. ಪ್ರಾಣಾಪಾಯದಿಂದ ಪಾರಾಗಲು ತಮ್ಮಲ್ಲಿದ್ದ ಸರಕು ಸಾಮಾಗ್ರಿಗಳನ್ನು ಸಮುದ್ರಕ್ಕೆ ಎಸೆದರು. ಇಷ್ಟರೊಳಗೆ ಯೋನನು ಹಡಗಿನ ತಳಭಾಗಕ್ಕೆ ಇಳಿದುಹೋಗಿ ಹಾಯಾಗಿ ಮಲಗಿದ್ದನು. ಅವನಿಗೆ ಗಾಢನಿದ್ರೆ ಹತ್ತಿತ್ತು. ಇದನ್ನು ಕಂಡ ನೌಕಾಧಿಕಾರಿ ಅಲ್ಲಿಗೆ ಬಂದು, ಅವನನ್ನು ಎಬ್ಬಿಸುತ್ತಾ, " ಏನಯ್ಯಾ, ಹಾಯಾಗಿ ಇಲ್ಲಿ ನಿದ್ರೆ ಮಾಡುತ್ತಿದ್ದೀಯಲ್ಲ, ಎದ್ದೇಳು. ನಿನ್ನ ದೇವರಿಗೆ ಮೊರೆಯಿಡು. ಅವರಾದರೂ ನಮ್ಮ ಮೇಲೆ ಕರುಣೆತೋರಿ, ನಾವು ನಾಶವಾಗದಂತೆ ಕಾಪಾಡಿಯಾರು, " ಎಂದನು. ಆಮೇಲೆ ನಾವಿಕರು: " ನಮಗೆ ಸಂಭವಿಸಿರುವ ಈ ದುರಂತಕ್ಕೆ ಕಾರಣ ಯಾರಿರಬಹುದು? ಬನ್ನಿ, ಚೀಟುಹಾಕಿ ನೋಡೋಣ " ಎಂದು ತಮ್ಮತಮ್ಮಲ್ಲೇ ಮಾತನಾಡಿಕೊಂಡರು. ಹಾಗೆ ಮಾಡಿದಾಗ ಚೀಟು ಯೋನನ ಹೆಸರಿಗೆ ಬಂತು. ಆಗ ನಾವಿಕರು: " ನೀನು ಯಾರು? ಎಲ್ಲಿಂದ ಬಂದೆ? ಯಾವ ಕೆಲಸದ ಮೇಲೆ ಬಂದೆ? ನೀನು ಯಾವ ಜನಾಂಗದವನು? ಈ ದುರಂತಕ್ಕೆ ಕಾರಣ ಯಾರು? " ಎಂದು ಪ್ರಶ್ನಿಸಿದರು. ಅದಕ್ಕೆ ಯೋನನು: " ನಾನು ಹಿಬ್ರಿಯನು. ಸಮುದ್ರವನ್ನೂ ಭೂಮಿಯನ್ನೂ ಸೃಷ್ಟಿಸಿದ ಪರಲೋಕ ದೇವರಾದ ಸರ್ವೇಶ್ವರನ ಭಕ್ತನು ನಾನು, " ಎಂದು ಉತ್ತರಿಸಿದನು. ಅಲ್ಲದೆ ತಾನು ಆ ಸ್ವಾಮಿಯ ಸನ್ನಿಧಿಯಿಂದ ಓಡಿಹೋಗುತ್ತಿರುವುದಾಗಿಯೂ ತಿಳಿಸಿದನು. ಇದನ್ನು ಕೇಳಿದ್ದೇ ನಾವಿಕರು ಭಯಭ್ರಾಂತರಾದರು. " ಎಂಥಾ ತಪ್ಪು ಮಾಡಿದೆ! " ಎಂದು ಅವನನ್ನು ಖಂಡಿಸಿದರು. ಆಗ ಬಿರುಗಾಳಿ ಮತ್ತಷ್ಟು ತೀವ್ರಗೊಳ್ಳುತ್ತಿತ್ತು. ನಾವಿಕರು ಯೋನನಿಗೆ: " ಸಮುದ್ರ ಶಾಂತವಾಗಬೇಕಾದರೆ ನಿನ್ನನ್ನು ಏನು ಮಾಡಬೇಕು? ಹೇಳು, " ಎಂದು ಕೇಳಿದರು. ಯೋನನು: " ನನ್ನನ್ನು ಎತ್ತಿ ಸಮುದ್ರಕ್ಕೆ ಎಸೆಯಿರಿ. ಆಗ ಅದು ಶಾಂತವಾಗುವುದು. ನೀವು ಇಂಥ ಭೀಕರ ಬಿರುಗಾಳಿಗೆ ತುತ್ತಾಗಲು ನಾನೇ ಕಾರಣ. ಇದನ್ನು ನಾನು ಚೆನ್ನಾಗಿ ಬಲ್ಲೆ, " ಎಂದನು. ನಾವಿಕರು ಅವನ ಸಲಹೆಗೆ ಒಪ್ಪದೆ, ಹಡಗನ್ನು ದಡಕ್ಕೆ ಸಾಗಿಸಲು ತಮ್ಮ ಶಕ್ತಿ ಸಾಮರ್ಥ್ಯವನ್ನೆಲ್ಲ ಪ್ರಯೋಗಿಸಿ ಹುಟ್ಟುಹಾಕಿದರು. ಆದರೆ ಸಾಧ್ಯವಾಗಲಿಲ್ಲ. ಸಮುದ್ರವು ಅಲ್ಲೋಲಕಲ್ಲೋಲವಾಗುತ್ತಲೇ ಇತ್ತು. ಆಗ ಅವರು ಬೇರೆ ದಿಕ್ಕುತೋಚದೆ ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತಾ : " ಸ್ವಾಮಿ, ಈ ನಿರಪರಾಧಿಯ ಪ್ರಾಣಹಾನಿಗೆ ನಾವು ಹೊಣೆಯಲ್ಲ. ಇದಕ್ಕಾಗಿ ನಮ್ಮನ್ನು ನಾಶಮಾಡಬೇಡಿ. ಇದೆಲ್ಲವೂ ಸಂಭವಿಸಿರುವುದು ನಿಮ್ಮ ಚಿತ್ತವಲ್ಲವೇ? " ಎಂದು ದೈನ್ಯದಿಂದ ಪ್ರಾರ್ಥಿಸಿದರು. ಬಳಿಕ ಅವರು ಯೋನನನ್ನು ಎತ್ತಿ ಸಮುದ್ರಕ್ಕೆ ಎಸೆದರು. ತಕ್ಷಣವೇ, ಭೋರ್ಗರೆಯುತ್ತಿದ್ದ ಸಮುದ್ರ ಶಾಂತವಾಯಿತು. ಇದನ್ನು ಕಂಡು ಜನರು ಸರ್ವೇಶ್ವರಸ್ವಾಮಿಗೆ ಬಹುವಾಗಿ ಭಯಪಟ್ಟರು, ಯಜ್ಞವನ್ನು ಅರ್ಪಿಸಿ, ಹರಕೆಗಳನ್ನು ಸಲ್ಲಿಸಿದರು. ಇತ್ತ ಸರ್ವೇಶ್ವರಸ್ವಾಮಿಯ ಆಜ್ಞಾನುಸಾರ ದೊಡ್ಡ ಮೀನೊಂದು ಬಂದು ಯೋನನನ್ನು ನುಂಗಿತು. ಅವನು ಆದರ ಹೊಟ್ಟೆಯಲ್ಲಿ ಮೂರು ಹಗಲು, ಮೂರು ಇರುಳು ಇದ್ದನು. ಸರ್ವೇಶ್ವರಸ್ವಾಮಿಯ ಆಜ್ಞೆಯ ಪ್ರಕಾರ ಆ ಮೀನು ಯೋನನನ್ನು ದಡದ ಮೇಲೆ ಕಕ್ಕಿತು.

ಕೀರ್ತನೆ ಯೋನ 2:2, 3, 4, 7
ಶ್ಲೋಕ: ಸರ್ವೇಶ್ವರಾ, ಮೇಲಕ್ಕೆತ್ತಿದೆಯೆನ್ನ ಜೀವಸಹಿತ.

ಸಂಕಟದಲಿ, ಸರ್ವೇಶ್ವರಾ, ನಾ ನಿನಗೆ ಮೊರೆಯಿಟ್ಟೆ|
ನೀನೆನ್ನ ಮೊರೆಗೆ ಕಿವಿಗೊಟ್ಟೆ||
ಪಾತಾಳದಂತರಾಳದಿಂದ ನಿನ್ನ ನೆರವನ್ನು ಬೇಡಿದೆ|
ನೀನೆನ್ನ ಪ್ರಾರ್ಥನೆಯನ್ನಾಲಿಸಿದೆ||

ಸಾಗರದ ಉದರಕೆ ನೀನೆನ್ನ ತಳ್ಳಿರುವೆ|
ಅಗಾಧ ಜಲದೊಳಕೆ ದೂಡಿರುವೆ||
ಸುತ್ತಮುತ್ತಲಿನ ಪ್ರವಾಹದ ಹೊಡೆತ|
ಮೇಲ್ಗಡೆ ಅಬ್ಬರಿಪ ಅಲೆಗಳ ಭೋರ್ಗರೆತ||

ನಿನ್ನ ಸನ್ನಿಧಿಯಿಂದ ನಾನಿನ್ನು ಬಹಿಷ್ಕ್ರತ|
ಕಾಣೆನೆಂದೂ ನಿನ್ನ ಪವಿತ್ರಾಲಯ ನಿರುತ||
ಈ ಭಾಗ್ಯಗಳೆಲ್ಲ ಎನಗಿಲ್ಲವೆಂದು|
ಪರಿಪರಿಯಾಗಿ ಮರುಗುತಿರುವೆನಿಂದು||

ನಂದಿದಂತಾಗಲು ಎನ್ನ ಪ್ರಾರ್ಣದೀವಿಗೆ|
ಮೊರೆಯಿಟ್ಟೆ, ಸರ್ವೇಶ್ವರಾ, ನಾ ನಿನಗೆ||
ನಿನ್ನ ಪರಿಶುದ್ದ ಆಲಯದಲಿ ನೀನಾಸೀನನಿದ್ದೆ|
ಎನ್ನ ಪ್ರಾರ್ಥನೆಯನು ನೀನಾಲಿಸಿದೆ||

ಶುಭಸಂದೇಶ: ಲೂಕ 10:25-37


ಆ ಕಾಲದಲ್ಲಿ ಒಬ್ಬ ಶಾಸ್ತ್ರಜ್ಞನು ಎದ್ದು ಯೇಸುವನ್ನು ಪರೀಕ್ಷಿಸುವ ಉದ್ದೇಶದಿಂದ " ಬೋಧಕರೇ, ಅಮರಜೀವ ನನಗೆ ಪ್ರಾಪ್ತಿಯಾಗಬೇಕಾದರೆ ನಾನು ಮಾಡಬೇಕಾದುದು ಏನು? " ಎಂದು ಕೇಳಿದನು. ಅದಕ್ಕೆ ಯೇಸು, " ಧರ್ಮಶಾಸ್ತ್ರದಲ್ಲಿ ಏನು ಬರೆದಿದೆ? ಹೇಗೆ ಪಠಿಸುತ್ತೀಯೆ? " ಎಂದು ಮರುಪ್ರಶ್ನೆ ಹಾಕಿದರು. ಅವನು, " ' ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು ಮತ್ತು ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು ' ಎಂದಿದೆ, " ಎಂದು ಉತ್ತರ ಕೊಟ್ಟನು. ಯೇಸು, " ಸರಿಯಾಗಿ ಉತ್ತರಕೊಟ್ಟೆ. ಅದರಂತೆ ಮಾಡು. ನಿನಗೆ ಅಮರ ಜೀವ ಲಭಿಸುವುದು, " ಎಂದರು. ಆದರೆ ಆ ಶಾಸ್ತ್ರಜ್ಞನು ತನ್ನನ್ನು ತಾನೇ ಸಮರ್ಥಿಸಿಕೊಳ್ಳಲು,. " ನನ್ನ ನೆರೆಯವನು ಯಾರು? " ಎಂದು ಯೇಸುವನ್ನು ಮತ್ತೆ ಪ್ರಶ್ನಿಸಿದನು. ಆಗ ಯೇಸು ಅವನಿಗೆ ಹೀಗೆಂದು ವಿವರಿಸಿದರು: " ಒಬ್ಬನು ಜೆರುಸಲೇಮಿನಿಂದ ಇಳಿದು ಜೆರಿಕೋವಿಗೆ ಪ್ರಯಾಣ ಮಾಡುತ್ತಿದ್ದಾಗ, ದರೋಡೆಗಾರರ ಕೈಗೆ ಸಿಕ್ಕಿಬಿದ್ದ. ದರೋಡೆಗಾರರು ಅವನನ್ನು ಸುಲಿಗೆ ಮಾಡಿ, ಹೊಡೆದು ಬಡಿದು, ಅರೆಜೀವ ಮಾಡಿ ಅಲ್ಲೇ ಬಿಟ್ಟುಹೋದರು. ಅದೇ ಮಾರ್ಗವಾಗಿ ಒಬ್ಬ ಯಾಜಕನು ಹಾದು ಹೋಗಬೇಕಾಗಿ ಬಂದಿತು. ಈತನು, ಅವನನ್ನು ಕಂಡದ್ದೇ ಆಚೆ ಬಳಸಿಕೊಂಡು ಹೋದ. ಹಾಗೆಯೇ ಲೇವಿಯೊಬ್ಬನು ಆ ಸ್ಥಳಕ್ಕೆ ಬಂದು ಅವನನ್ನು ನೋಡಿ, ಹಾಗೆಯೇ ಬಳಸಿಕೊಂಡು ಹೋದ. ಆದರೆ ಆ ಮಾರ್ಗವಾಗಿ ಪ್ರಯಾಣಮಾಡುತ್ತಿದ್ದ ಒಬ್ಬ ಸಮಾರಿಯದವನು ಅಲ್ಲಿಗೆ ಬಂದಾಗ, ಅವನನ್ನು ಕಂಡು ಕನಿಕರಪಟ್ಟ. ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹಚ್ಚಿ ಅವುಗಳಿಗೆ ಬಟ್ಟೆ ಕಟ್ಟಿದ. ಬಳಿಕ ಅವನನ್ನು ತನ್ನ ಸ್ವಂತ ವಾಹಕಪಶುವಿನ ಮೇಲೆ ಹತ್ತಿಸಿಕೊಂಡು ಒಂದು ಛತ್ರಕ್ಕೆ ಕರೆದುಕೊಂಡು ಹೋಗಿ, ಆರೈಕೆ ಮಾಡಿದ. ಮಾರನೆಯ ದಿನ ಎರಡು ದಿನಾರಿ ನಾಣ್ಯಗಳನ್ನು ಛತ್ರದವನಿಗೆ ಕೊಟ್ಟು, ' ಇವನನ್ನು ಚೆನ್ನಾಗಿ ನೋಡಿಕೊ, ಇದಕ್ಕಿಂತ ಹೆಚ್ಚು ವೆಚ್ಚವಾದರೆ ನಾನು ಹಿಂದಿರುಗಿ ಬರುವಾಗ ಸಲ್ಲಿಸುತ್ತೇನೆ, ' ಎಂದ. " ದರೋಡೆಗಾರರ ಕೈಗೆ ಸಿಕ್ಕಿದವನಿಗೆ ಈ ಮೂವರಲ್ಲಿ ಯಾರು ನೆರೆಯವನೆಂದು ನಿನಗೆ ತೋರುತ್ತದೆ? " ಎಂದು ಯೇಸು ಆ ಶಾಸ್ತ್ರಜ್ಞನನ್ನು ಕೇಳಿದರು. ಅದಕ್ಕೆ ಅವನು, " ದಯೆ ತೋರಿದವನೇ ನೆರೆಯವನು, " ಎಂದನು. ಆಗ ಯೇಸು, " ಹೋಗು, ನೀನೂ ಹಾಗೆಯೇ ಮಾಡು, " ಎಂದು ಹೇಳಿದರು.

03.10.21 - " ದೇವರು ಒಂದುಗೂಡಿಸಿದ್ದನ್ನು ಮನುಷ್ಯನು ಬೇರ್ಪಡಿಸದಿರಲಿ."

ಮೊದಲನೆಯ ವಾಚನ: ಆದಿಕಾಂಡ 2:18-24

ಅನಂತರ ದೇವರಾದ ಸರ್ವೇಶ್ವರ, " ಮುನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ, ಅವನಿಗೆ ಸರಿಬೀಳುವ ಸಹಕಾರಿಯನ್ನು ಸೃಷ್ಟಿಮಾಡುವೆನು, " ಎಂದರು. ಎಲ್ಲ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ ಮಣ್ಣಿನಿಂದ ನಿರ್ಮಿಸಿದ ಅವರು, ಮನುಷ್ಯನು ಇವುಗಳಿಗೆ ಏನೇನು ಹೆಸರಿಡುವನೋ ನೋಡೋಣವೆಂದು ಅವನ ಬಳಿಗೆ ಅವುಗಳನ್ನು ಬರಮಾಡಿದರು. ಆ ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳಿಗೆ ಹೆಸರಾಯಿತು. ಹೀಗೆ ಮನುಷ್ಯನು ಎಲ್ಲ ಸಾಕುಪ್ರಾಣಿಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಹೆಸರಿಟ್ಟನು, ಆದರೆ ಅವನಿಗೆ ಸರಿಬೀಳುವ ಜೊತೆಗಾತಿ ಅವುಗಳಲ್ಲಿ ಕಾಣಿಸಲಿಲ್ಲ. ಹೀಗಿರುವಲ್ಲಿ ದೇವರಾದ ಸರ್ವೇಶ್ವರ ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿದರು. ಅವನು ನಿದ್ರಿಸುತ್ತಿರುವಾಗ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು. ಆ ಎಲುಬನ್ನು ಮಹಿಳೆಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಬರಮಾಡಿದರು. ಅವನು ಆಕೆಯನ್ನು ನೋಡಿ ಹೀಗೆಂದನು: ' ಸರಿ, ನನಗೀಗ ಇವಳು ನನ್ನೆಲುಬಿನ ಎಲುಬು, ನನ್ನೊಡಲಿನ ಒಡಲು ನರನಿಂದ ಉತ್ಪತ್ತಿಯಾದಿವಳನ್ನು ನಾರಿಯೆಂದೇ ಕರೆವರು." ಈ ಕಾರಣ, ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಒಡಲಾಗಿ ಬಾಳುವರು.

ಕೀರ್ತನೆ 128:1-6
ಶ್ಲೋಕ: ಪ್ರಭು ನಿನ್ನನ್ನು ಆಶೀರ್ವದಿಸಲಿ ಇಡೀ ಜೀವಮಾನವೆಲ್ಲ.

ಧನ್ಯನು, ಪ್ರಭುವಿನಲಿ ಭಯಭಕ್ತಿಯುಳ್ಳವನು|
ಧನ್ಯನು, ಆತನ ಮಾರ್ಗಗಳಲೇ ನಡೆಯುವವನು||
ನಿನ್ನ ಕೈ ಕೆಸರಾದರೆ ಬಾಯಿ ಮೊಸರಾಗುವುದು|
ಧನ್ಯನಾಗುವೆ ನೀನು, ನಿನಗೆ ಶುಭವಾಗುವುದು||

ಇರುವಳು ನಿನ್ನ ಪತ್ನಿ ಮನೆಯಲಿ ಫಲಭರಿತ ದ್ರಾಕ್ಷಲತೆಯಂತೆ|
ಕೂರುವರು ನಿನ್ನ ಮಕ್ಕಳು ಊಟದ ಪಂಕ್ತಿಯಲಿ ಓಲಿವ್ ಸಸಿಗಳಂತೆ||
ಹೊಂದುವನು ಅಂತಹ ಆಶೀರ್ವಾದವನು|
ಪ್ರಭುವಿನಲಿ ಭಯಭಕ್ತಿಯುಳ್ಳವನು||

ಸಿಯೋನಿನಲ್ಲಿರುವ ಪ್ರಭು ನಿನ್ನನ್ನು ಆಶೀರ್ವದಿಸಲಿ|
ಜೆರುಸಲೇಮಿನ ಏಳ್ಗೆಯನು ಕಾಣು ಇಡೀ ಜೀವಮಾನದಲಿ||
ಮಕ್ಕಳ ಮಕ್ಕಳನು ನೀನು ಕಾಣುವಂತಾಗಲಿ|
ಇಸ್ರಯೇಲಿನ ಮಕ್ಕಳಿಗೆ ಸುಖಶಾಂತಿ ಲಭಿಸಲಿ||

ಎರಡನೆಯ ವಾಚನ: ಹಿಬ್ರಿಯರಿಗೆ  2:9-11

ಸಹೋದರರೇ, ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ, ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾಮರಣವನ್ನು ಅನುಭವಿಸಿದ್ದರಿಂದ ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು. ಸಮಸ್ತವನ್ನೂ ಸೃಷ್ಟಿಸಿ ಪರಿಪಾಲಿಸಿಕೊಂಡುಬರುವ ದೇವರು ತಮ್ಮ ಮಹಿಮೆಯಲ್ಲಿ ಪಾಲುಗೊಳ್ಳಲು ಮಕ್ಕಳನೇಕರನ್ನು ಕರೆತರುವಂತೆ ಉದ್ಧಾರ ಪ್ರವರ್ತಕರಾದ ಯೇಸುವನ್ನು ಹಿಂಸೆಬಾಧೆಗಳ ಮೂಲಕ ಪರಿಪೂರ್ಣವಾಗಿಸಿದ್ದು ಯುಕ್ತವೇ ಸರಿ. ಪವಿತ್ರಗೊಳಿಸುವವನಿಗೂ ಪವಿತ್ರರಾಗುವವರಿಗೂ ಒಬ್ಬನೇ ತಂದೆ. ಈ ಕಾರಣ, ಪವಿತ್ರಗೊಳಿಸುವ ಯೇಸು, ಪವಿತ್ರರಾಗುವವರನ್ನು ' ಸಹೋದರರು ' ಎಂದು ಕರೆಯಲು ನಾಚಿಕೆಪಡಲಿಲ್ಲ.

ಶುಭಸಂದೇಶ ವಾಚನ: ಮಾರ್ಕ 10:2-16

ಆ ಕಾಲದಲ್ಲಿ ಫರಿಸಾಯರಲ್ಲಿ ಕೆಲವರು, ಅವರನ್ನು ಮಾತಿನಲ್ಲಿ ಸಿಕ್ಕಿಸುವ ಉದ್ದೇಶದಿಂದ, " ಗಂಡನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೇ? " ಎಂದು ಕೇಳಿದರು. ಯೇಸು, " ಈ ವಿಷಯವಾಗಿ ಮೋಶೆ ನಿಮಗೆ ಏನೆಂದು ವಿಧಿಸಿದ್ದಾನೆ? " ಎಂದು ಅವರನ್ನೇ ಪುನಃ ಪ್ರಶ್ನಿಸಿದರು. ಅದಕ್ಕೆ ಅವರು, ವಿವಾಹ ವಿಚ್ಛೇದನ ಪತ್ರವನ್ನು ಕೊಟ್ಟು ಹೆಂಡತಿಯನ್ನು ಬಿಟ್ಟುಬಿಡಲು ಮೋಶೆ ಅನುಮತಿ ಇತ್ತಿದ್ದಾನೆ, " ಎಂದರು. ಆಗ ಯೇಸು, " ನಿಮ್ಮ ಹೃದಯ ಕಲ್ಲಾಗಿದ್ದುದರಿಂದಲೇ ಮೋಶೆ ಈ ನಿಯಮವನ್ನು ಬರೆದಿಟ್ಟನು. ಆದರೆ ಸೃಷ್ಟಿಯ ಆರಂಭದಿಂದಲೇ ' ದೇವರು ಮನುಷ್ಯರನ್ನು ಗಂಡುಹೆಣ್ಣಾಗಿ ನಿರ್ಮಿಸಿದ್ದಾರೆ. ಈ ಕಾರಣದಿಂದ ಗಂಡನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಕೂಡಿಕೊಂಡು ಅವರಿಬ್ಬರೂ ಒಂದಾಗಿ ಬಾಳುವರು ' ಎನ್ನುತ್ತದೆ ಪವಿತ್ರಗ್ರಂಥ. ಹೀಗಿರುವಲ್ಲಿ ಇನ್ನು ಮುಂದೆ ಅವರು ಇಬ್ಬರಲ್ಲ, ಒಂದೇ ಶರೀರ. ಆದುದರಿಂದ ದೇವರು ಒಂದುಗೂಡಿಸಿದ್ದನ್ನು ಮನುಷ್ಯನು ಬೇರ್ಪಡಿಸದಿರಲಿ, " ಎಂದರು. ಅಂದು, ಮನೆಗೆ ಹೋದ ಬಳಿಕ ಶಿಷ್ಯರು, ಅದೇ ವಿಷಯವಾಗಿ ಯೇಸುವನ್ನು ವಿಚಾರಿಸಿದರು. ಅದಕ್ಕೆ ಅವರು, " ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಯಾಗುವವನು ಆಕೆಗೆ ದ್ರೋಹ ಬಗೆದು ವ್ಯಭಿಚಾರಿಯಾಗುತ್ತಾನೆ. ಅಂತೆಯೇ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ವಿವಾಹವಾಗುವವಳು ವ್ಯಭಿಚಾರಿಣಿಯಾಗುತ್ತಾಳೆ, " ಎಂದರು. ಮತ್ತೆ ಕೆಲವರು, ತಮ್ಮ ಚಿಕ್ಕಮಕ್ಕಳನ್ನು ಮುಟ್ಟಿ ಹರಸಲೆಂದು ಅವುಗಳನ್ನು ಯೇಸುಸ್ವಾಮಿಯ ಬಳಿಗೆ ಕರೆತಂದರು. ಶಿಷ್ಯರು ಆ ಜನರನ್ನು ಗದರಿಸಿದರು. ಇದನ್ನು ಕಂಡ ಯೇಸು ಸಿಟ್ಟುಗೊಂಡು ಶಿಷ್ಯರಿಗೆ, " ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ. ಅವರನ್ನು ತಡೆಯಬೇಡಿ, ದೇವರ ಸಾಮ್ರಾಜ್ಯ ಇಂಥವರದೇ. ದೇವರ ಸಾಮ್ರಾಜ್ಯವನ್ನು ಶಿಶುಭಾವದಿಂದ ಅಂಗೀಕರಿಸದೆ ಇರುವವನು ಅದನ್ನು ಎಂದಿಗೂ ಸೇರಲಾರನು, ಇದು ನಿಶ್ಚಯ, " ಎಂದರು. ಅನಂತರ ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಗಳನ್ನಿರಿಸಿ ಹರಸಿದರು.

02.10.21 - "ನಿಮ್ಮ ಹೆಸರುಗಳು ಸ್ವರ್ಗದಲಿ ಲಿಖಿತವಾಗಿವೆ ಎಂದು ಸಂತೋಷಪಡಿ."

ಮೊದಲನೆಯ ವಾಚನ: ಬಾರೂಕ 4:5-12, 27-29

ನನ್ನ ಜನರೇ, ಧೈರ್ಯದಿಂದಿರಿ, ಇಸ್ರಯೇಲಿನ ಹೆಸರನ್ನು ನೀವು ಉಳಿಸಬಲ್ಲಿರಿ. ನೀವು ಅನ್ಯರಾಷ್ಟ್ರಗಳಿಗೆ ಮಾರಲ್ಪಟ್ಟಿರುವುದು ವಿನಾಶಕ್ಕಾಗಿ ಅಲ್ಲ ನೀವು ಶತ್ರುಗಳ ವಶವಾಗಿರುವುದು ದೇವರನ್ನು ಸಿಟ್ಟಿಗೆಬ್ಬಿಸಿದ್ದರಿಂದ, ದೇವರನ್ನು ತೊರೆದು ದೆವ್ವಗಳಿಗೆ ಬಲಿಯರ್ಪಿಸಿದ್ದರಿಂದ ನಿಮ್ಮ ಸೃಷ್ಟಿಕರ್ತನ ಕೋಪವನ್ನು ಕೆರಳಿಸಿದ್ದರಿಂದ, ನಿಮ್ಮನ್ನು ಪೋಷಿಸಿದ ಮಾತೆ ಜೆರುಸಲೇಮನ್ನು ನೋಯಿಸಿದ್ದರಿಂದ. ನಿಮ್ಮ ಮೇಲೆ ಎರಗಲಿದ್ದ ದೇವಕೋಪವನ್ನು ಆಕೆ ಹೀಗೆಂದು ಬಣ್ಣಿಸಿದಳು, 'ಸಿಯೋನಿನ ನೆರೆಹೊರೆಯಲ್ಲಿ ವಾಸಿಸಿದವರೇ ಕೇಳಿ: ದೇವರು ನನ್ನ ಮೇಲೆ ಬರಮಾಡಿದ್ದಾರೆ ಮಹಾಕಸ್ತಿ ಶಾಶ್ವತರಾದ ದೇವರು ನನ್ನ ಪುತ್ರಿಯರ ಮೇಲೆ ಬರಮಾಡಿರುವ ಗಡೀಪಾರನ್ನು ನಾನು ಅರಿತಿರುವೆ. ಮುದದಿಂದ ನಾನಿವರನ್ನು ಸಲಹಿದೆ, ದುಃಖದಿಂದ ಕಣ್ಣೀರಿಡುತ್ತಾ ಕಳುಹಿಸಿಕೊಟ್ಟೆ. ನಾನೊಬ್ಬ ವಿಧವೆ, ಹಲವರಿಂದ ನಿರಾಕೃತಳು ನನ್ನನ್ನು ನೋಡಿ ಯಾರೂ ಆನಂದಿಸಬಾರದು: ದೇವರ ಧರ್ಮಶಾಸ್ತ್ರವನ್ನು ಬಿಟ್ಟು ನನ್ನ ಮಕ್ಕಳು ದೂರಸರಿದರು ಅವರ ಪಾಪಕೃತ್ಯಗಳ ನಿಮಿತ್ತ ನಾನು ಹಾಳುಬೀಳಬೇಕಾಯಿತು. ಮಕ್ಕಳೇ, ಧೈರ್ಯದಿಂದಿರಿ, ಮೊರೆಯಿಡಿ ದೇವರಿಗೆ, ಇದನ್ನೆಲ್ಲಾ ಬರಮಾಡಿದಾತ ತಂದುಕೊಳ್ಳುವನು ನಿಮ್ಮನ್ನು. ನೆನಪಿಗೆ. ದೇವರಿಗೆ ವಿಮುಖರಾಗಲು ಮನಸ್ಸು ಮಾಡಿದಿರಿ ಈಗ ಅವರಿಗೆ ಅಭಿಮುಖರಾಗಲು ಹತ್ತರಷ್ಟು ಮನಸ್ಸುಮಾಡಿರಿ. ನಿಮಗೆ ಈ ವಿಪತ್ತನ್ನು ಬರಮಾಡಿದಾತನು ನಿಮ್ಮ ಉದ್ಧಾರದೊಂದಿಗೆ ಶಾಶ್ವತ ಸಂತಸವನ್ನುಂಟುಮಾಡುವನು.'

ಕೀರ್ತನೆ 69:32-34, 35-36
ಶ್ಲೋಕ: ಬಡಬಗ್ಗರ ಮೊರೆಗೆ ಪ್ರಭು ಕಿವಿಗೊಡದಿರನು.

ಇದನರಿತು ದೀನದಲಿತರು ಆನಂದಗೊಳ್ಳಲಿ|
ದೇವನನು ಅರಸುವವರು ಪುನಶ್ಚೇತನಗೊಳ್ಳಲಿ||
ಬಡಬಗ್ಗರ ಮೊರೆಗೆ ಪ್ರಭು ಕಿವಿಗೊಡದಿರನು|
ಸೆರೆಯಲ್ಲಿರುವ ತನ್ನವರನು ತಿರಸ್ಕರಿಸನು||
ಭೂಮ್ಯಾಕಾಶಗಳು ಆತನನು ಕೊಂಡಾಡಲಿ|
ಸಾಗರಗಳು, ಜಲಚರಗಳು ಆತನನು ಭಜಿಸಲಿ||

ರಕ್ಷಿಸುವನು ದೇವನು ಆ ಸಿಯೋನ್ ಪಟ್ಟಣವನು|
ಕಟ್ಟಿಸುವನು ಯೆಹೂದ ನಾಡಿನ ನಗರಗಳನು|
ಸ್ವಂತವಾಗಿಸಿಕೊಳ್ಳುವರು ಆತನ ಪ್ರಜೆ ಅದನು||
ಅವರ ವಂಶಜರೇ ಬಾಧ್ಯಸ್ಥರಾಗುವರದಕೆ|
ದೇವರ ನಾಮಪ್ರಿಯರೇ ನಿವಾಸಿಗಳು ಅದಕೆ||

ಶುಭಸಂದೇಶ: ಲೂಕ 10:17-24


ಆ ಕಾಲದಲ್ಲಿ ಕಳುಹಿಸಲಾಗಿದ್ದ ಎಪ್ಪತ್ತೆರಡು ಮಂದಿ ಸಂತೋಷಭರಿತರಾಗಿ ಹಿಂದಿರುಗಿ ಬಂದು, "ಸ್ವಾಮಿ, ನಿಮ್ಮ ಹೆಸರಿನಲ್ಲಿ ಆಜ್ಞೆ ಮಾಡಿದಾಗ ದೆವ್ವಗಳು ಕೂಡ ನಮಗೆ ಅಧೀನವಾಗುತ್ತವೆ, " ಎಂದು ವರದಿಮಾಡಿದರು. ಅದಕ್ಕೆ ಯೇಸು, " ಸೈತಾನನು ಆಕಾಶದಿಂದ ಸಿಡಿಲಿನಂತೆ ಬೀಳುವುದನ್ನು ಕಂಡೆನು. ಇಗೋ, ಸರ್ಪಗಳನ್ನು ಹಾಗೂ ಚೇಳುಗಳನ್ನು ತುಳಿಯುವುದಕ್ಕೂ ಶತ್ರುವಿನ ಸಮಸ್ತ ಶಕ್ತಿಯನ್ನು ಜಯಿಸುವುದಕ್ಕೂ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಹಾನಿಮಾಡದು. ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲಿ ಲಿಖಿತವಾಗಿವೆ ಎಂದು ಸಂತೋಷಪಡಿ, " ಎಂದು ಹೇಳಿದರು. ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, " ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ, ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೆರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು, " ಎಂದು ಹೇಳಿದರು. ಅನಂತರ ಯೇಸು ಶಿಷ್ಯರ ಕಡೆ ತಿರುಗಿ, ಅವರಿಗೆ ಪ್ರತ್ಯೇಕವಾಗಿ, " ನೀವು ಕಾಣುವುದನ್ನು ಕಾಣುವ ಕಣ್ಣುಗಳು ಭಾಗ್ಯವುಳ್ಳವು. ಏಕೆಂದರೆ, ಎಷ್ಟೋ ಪ್ರವಾದಿಗಳು ಹಾಗೂ ಅರಸರು ನೀವು ನೋಡುವುದನ್ನು ನೋಡುವುದಕ್ಕೂ ನೀವು ಕೇಳುವುದನ್ನೂ ಕೇಳುವುದಕ್ಕೂ ಆಶಿಸಿದರು. ಆದರೂ ಅದನ್ನು ಅವರು ನೋಡಲೂ ಇಲ್ಲ, ಕೇಳಲೂ ಇಲ್ಲ ಎಂದು ನಿಮಗೆ ಹೇಳುತ್ತೇನೆ, " ಎಂದರು.

29.08.2026 - ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು

  ಸಂತ ಸ್ನಾನಿಕ ಯೊವಾನ್ನನ ಶಿರಚ್ಛೇದನ ಮೊದಲನೇ ವಾಚನ: ಯೆರೆಮಿಯ: 1: 17-19 ಆದುದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲ...