14.06.22 - ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ?

ಮೊದಲನೇ ವಾಚನ: 1 ಅರಸುಗಳು 21:17-29


ಆಗ ತಿಷ್ಬೀಯನಾದ ಎಲೀಯನಿಗೆ ಸರ್ವೇಶ್ವರನ ವಾಣಿವುಂಟಾಯಿತು. “ನೀನು ಹೋಗಿ ಸಮಾರಿಯಲ್ಲಿ ವಾಸಿಸುವ ಇಸ್ರಯೇಲ್ ಅರಸನನ್ನು ಕಾಣು; ಅವನು ಈಗ ನಾಬೋತನ ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅಲ್ಲಿಗೆ ಹೋಗಿದ್ದಾನೆ; ಅವನಿಗೆ, “ನೀನು ಕೊಲೆಮಾಡಿ, ಸೊತ್ತನ್ನು ಸಂಪಾದಿಸಿಕೊಂಡೆಯಲ್ಲವೇ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವುವು, ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು.” ಅಹಾಬನು ಎಲೀಯನನ್ನು ನೋಡಿ, “ಎಲೈ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ?” ಎಂದು ಕೇಳಿದನು. ಅವನು, “ಹೌದು, ಕಂಡುಹಿಡಿದೆ, ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದೆ. ಸರ್ವೇಶ್ವರ ನಿನ್ನನ್ನು ಕುರಿತು, ‘ನಾನು ನಿನ್ನ ಮೈಮೇಲೆ ಕೇಡನ್ನು ಬರಮಾಡಿ, ನಿನ್ನನ್ನು ಕಸದಂತೆ ತೆಗೆದುಹಾಕುವೆನು; ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಪರತಂತ್ರರಾಗಲಿ ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಕಡಿದುಬಿಡುವೆನು. ನೀನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿ, ನನಗೆ ಕೋಪವನ್ನೆಬ್ಬಿಸಿದ್ದರಿಂದ ನೆಬಾಟನ ಮಗ ಯಾರೊಬ್ಬಾಮನ ಮನೆಗೂ ಅಹೀಯನ ಮಗ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವುದು,’ ಎನ್ನುತ್ತಾರೆ. ಇದಲ್ಲದೆ ಈಜೆಬೆಲಳನ್ನು ಕುರಿತು ಅವರು, ‘ನಾಯಿಗಳು ಜೆಸ್ರೀಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವುವು; ಅಹಾಬನ ಮನೆಯವರಲ್ಲಿ ಊರೊಳಗೆ ಸಾಯುವಂಥವರನ್ನು ನಾಯಿಗಳೂ ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವುವು’ ಎಂದು ಹೇಳುತ್ತಾರೆ,” ಎಂದನು. ಹೆಂಡತಿ ಈಜೆಬೆಲಳಿಂದ ಪ್ರಚೋದಿತನಾಗಿ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ. ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆ ಬಹಳ ಅಸಹ್ಯವಾಗಿತ್ತು. ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ದುಃಖದಿಂದ ಹರಿದುಕೊಂಡನು; ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ವರ್ತಿಸಿದನು. ಆದುದರಿಂದ ಸರ್ವೇಶ್ವರ ತಿಷ್ಬೀಯನಾದ ಎಲೀಯನಿಗೆ, “ಅಹಾಬನು ನನ್ನ ಮುಂದೆ ತನ್ನನ್ನೇ ತಗ್ಗಿಸಿಕೊಂಡದ್ದನ್ನು ನೋಡಿದಿಯಲ್ಲವೇ? ಅವನು ಹೀಗೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡಿಸುವುದಿಲ್ಲ. ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಬರಮಾಡುವೆನು,” ಎಂದು ಹೇಳಿದರು.

ಕೀರ್ತನೆ: 51:3-4, 5-6, 11, 16

ಶ್ಲೋಕ: ಕೃಪಾಳು ದೇವಾ, ಕರುಣಿಸೆನ್ನನು, ನಿನಗೆ ದ್ರೋಹವೆಸಗಿದೆ

ಶುಭಸಂದೇಶ: ಮತ್ತಾಯ 5:43-48


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೇಳಿದ್ದೇನೆಂದರೆ: “ ‘ಮಿತ್ರರನ್ನು ಪ್ರೀತಿಸು, ಶತ್ರುವನ್ನು ದ್ವೇಷಿಸು’ ಎಂದು ಹೇಳಿರುವುದು ನಿಮಗೆ ತಿಳಿದೇ ಇದೆ. ನಾನು ಹೇಳುವುದನ್ನು ಗಮನಿಸಿರಿ; ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ. ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ. ನಿಮ್ಮನ್ನು ಪ್ರೀತಿಸುವವರನ್ನು ಮಾತ್ರ ನೀವು ಪ್ರೀತಿಸಿದರೆ ಅದರಿಂದೇನು ಫಲ? ಸುಂಕ ವಸೂಲಿ ಮಾಡುವವರೂ ಹಾಗೆ ಮಾಡುವುದಿಲ್ಲವೇ? ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ? ಅನ್ಯಜನರೂ ಹಾಗೆ ಮಾಡುತ್ತಾರಲ್ಲವೇ? ಆದುದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.”

13.06.22 - "ಒಬ್ಬನು ಹೊಡೆದರೆ ಇನ್ನೊಂದು ಕೆನ್ನೆಯನ್ನೂ ಒಡ್ಡು"

ಮೊದಲನೇ ವಾಚನ: 1 ಅರಸುಗಳು 21:1-16


ಜೆಸ್ರೀಲಿನಲ್ಲಿ, ಸಮಾರಿಯದ ಅರಸ ಅಹಾಬನ ಅರಮನೆಯ ಹತ್ತಿರ ಜೆಸ್ರೀಲಿನವನಾದ ನಾಬೋತನೆಂಬ ವ್ಯಕ್ತಿಗೆ ಒಂದು ದ್ರಾಕ್ಷೀತೋಟವಿತ್ತು. ಅಹಾಬನು ಆ ನಾಬೋತನಿಗೆ, “ನಿನ್ನ ದ್ರಾಕ್ಷೀತೋಟವನ್ನು ನನಗೆ ಕೊಡು; ಅದು ನನ್ನ ಅರಮನೆಯ ಹತ್ತಿರವಿರುವುದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುತ್ತೇನೆ; ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ; ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ,” ಎಂದು ಹೇಳಿದನು. ಅದಕ್ಕೆ ನಾಬೋತನು, “ಪಿತ್ರಾರ್ಜಿತ ಸೊತ್ತನ್ನು ನಿಮಗೆ ಮಾರದಂತೆ ಸರ್ವೇಶ್ವರ ನನ್ನನ್ನು ತಡೆಯಲಿ!” ಎಂದು ಉತ್ತರಕೊಟ್ಟನು. ಪಿತ್ರಾರ್ಜಿತ ಸೊತ್ತನ್ನು ನಿನಗೆ ಕೊಡುವುದಿಲ್ಲವೆಂದು ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟುಗೊಂಡನು; ಗಂಟುಮೋರೆ ಮಾಡಿಕೊಂಡು ಮನೆಗೆ ಹೋಗಿ, ಊಟಮಾಡಲೊಲ್ಲದೆ ಮಂಚದ ಮೇಲೆ ಮಲಗಿ, ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು. ಆಗ ಅವನ ಹೆಂಡತಿ ಈಜೆಬೆಲಳು ಅವನ ಬಳಿಗೆ ಬಂದು, “ನೀವೇಕೆ ಊಟಮಾಡುವುದಿಲ್ಲ? ನಿಮಗೆ ಯಾವ ಚಿಂತೆ?” ಎಂದು ಕೇಳಿದಳು. ಅವನು, “ನಾನು ಜೆಸ್ರೀಲಿನವನಾದ ನಾಬೋತನಿಗೆ, ‘ನಿನ್ನ ದ್ರಾಕ್ಷೀತೋಟವನ್ನು ನನಗೆ ಮಾರಿಬಿಡು; ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷೀತೋಟವನ್ನು ಕೊಡುತ್ತೇನೆ ಎಂದು ಹೇಳಿದೆ; ಆದರೆ ಅವನು ಕೊಡುವುದಿಲ್ಲ ಎಂದುಬಿಟ್ಟ,” ಎಂದು ಉತ್ತರಕೊಟ್ಟನು. ಆಗ ಅವನ ಹೆಂಡತಿ ಈಜೆಬೆಲಳು, “ಇಸ್ರಯೇಲರ ಅರಸರಾದ ನೀವು ಹೀಗೆ ವರ್ತಿಸುವುದೇ! ಎದ್ದು ಊಟಮಾಡಿ, ಸಂತೋಷದಿಂದಿರಿ; ನಾನು ನಿಮಗೆ ಜೆಸ್ರೀಲಿನವನಾದ ನಾಬೋತನ ದ್ರಾಕ್ಷೀತೋಟವನ್ನು ಕೊಡುತ್ತೇನೆ,” ಎಂದು ನುಡಿದಳು. ಅಂತೆಯೇ ಅಹಾಬನ ಹೆಸರಿನಲ್ಲಿ ಒಂದು ಪತ್ರವನ್ನು ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನಪುರುಷರಿಗೂ ಹಿರಿಯರಿಗೂ ಕಳುಹಿಸಿದಳು. ಅದರಲ್ಲಿ, “ಎಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿರಿ: ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿರಿ; ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬುದಾಗಿ ಇಬ್ಬರು ದುಷ್ಟಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿರಿ; ಅವನನ್ನು ಹೊರಗೆ ಒಯ್ದು, ಕಲ್ಲೆಸೆದು ಕೊಲ್ಲಿರಿ,” ಎಂದು ಬರೆದಿದ್ದಳು. ಅವನ ಊರಿನ ಹಿರಿಯರೂ ಪ್ರಧಾನಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು. ಉಪವಾಸವನ್ನು ಪ್ರಕಟಿಸಿದರು, ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು; ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು. ನಾಬೋತನು ಕಲ್ಲೆಸೆತದಿಂದ ಸತ್ತ ಸಮಾಚಾರವನ್ನು ಆ ಹಿರಿಯರು ಈಜೆಬೆಲಳಿಗೆ ಮುಟ್ಟಿಸಿದರು. ಆಕೆ ಇದನ್ನು ಕೇಳಿ ಅಹಾಬನಿಗೆ, “ನೀವು ಹೋಗಿ ನಾಬೋತನು ಮಾರುವುದಿಲ್ಲವೆಂದು ಹೇಳಿದ ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳಿ. ಅವನು ಜೀವದಿಂದಿಲ್ಲ, ಸತ್ತನು,” ಎಂದು ಹೇಳಿದಳು. ಜೆಸ್ರೀಲಿನವನಾದ ನಾಬೋತನ ಮರಣವಾರ್ತೆಯನ್ನು ಅಹಾಬನು ಕೇಳಿ, ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋದನು.

ಕೀರ್ತನೆ: 5:2-3, 4-6, 6-7

ಶ್ಲೋಕ: ಕಿವಿಗೊಡು ಪ್ರಭೂ, ಎನ್ನ ನುಡಿಗೆ 

ಶುಭಸಂದೇಶ: ಮತ್ತಾಯ 5:38-42

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ ‘ಕಣ್ಣಿಗೆ ಪ್ರತಿಯಾಗಿ ಕಣ್ಣು, ಹಲ್ಲಿಗೆ ಬದಲಾಗಿ ಹಲ್ಲು’ ಎಂಬುದನ್ನು ನೀವು ಕೇಳಿದ್ದೀರಿ. ಆದರೆ ನನ್ನ ಬೋಧೆ ಇದು; ನಿನಗೆ ಅಪಕಾರ ಮಾಡಿದವನಿಗೆ ಪ್ರತೀಕಾರ ಮಾಡಬೇಡ. ನಿನ್ನ ಬಲಗೆನ್ನೆಗೆ ಒಬ್ಬನು ಹೊಡೆದರೆ ಇನ್ನೊಂದು ಕೆನ್ನೆಯನ್ನೂ ಒಡ್ಡು. ನಿನ್ನೊಡನೆ ವ್ಯಾಜ್ಯಮಾಡಿ ನಿನ್ನ ಒಳ ಅಂಗಿಯನ್ನು ಕಿತ್ತುಕೊಳ್ಳುವವನಿಗೆ ಹೊರ ಅಂಗಿಯನ್ನೂ ಕೊಟ್ಟುಬಿಡು. ಯಾರಾದರೂ ಒಂದು ಕಿಲೊಮೀಟರ್ ದೂರ ಬಾ ಎಂದು ನಿನ್ನನ್ನು ಒತ್ತಾಯಪಡಿಸಿದರೆ ಅವನೊಡನೆ ಎರಡು ಕಿಲೊಮೀಟರ್ ಹೋಗು; ಬೇಡಿಕೊಳ್ಳುವವನಿಗೆ ಕೊಡು. ಸಾಲ ಕೇಳಬಂದವನಿಂದ ಮುಖ ತಿರುಗಿಸಿಕೊಳ್ಳಬೇಡ.”

12.06.22 - "ಈ ನಂಬಿಕೆ ನಿರಿಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ"

ಮೊದಲನೇ ವಾಚನಜ್ಞಾನೋಕ್ತಿಗಳು 8:22--31

ಜ್ಞಾನವೆಂಬಾಕೆ ಇಂತೆನ್ನುತ್ತಾಳೆತನ್ನ ಸೃಷ್ಟಿಕ್ರಮದಲ್ಲಿ ಸರ್ವೇಶ್ವರ ನಿರ್ಮಿಸಿದ ನನ್ನನ್ನು ಮೊತ್ತಮೊದಲು ಆತನ ಪುರಾತನ  ಕಾರ್ಯಕ್ರಮಗಳಲ್ಲಿ ನಾನೇ ಪ್ರಥಮಳುನಾನು ಸ್ಥಾಪಿಸಲ್ಪಟ್ಟೆ ಪ್ರಾರಂಭದಲ್ಲೇ ಜಗದುತ್ಪತ್ತಿಗೆ ಮುಂಚೆಯೇಅನಾದಿಕಾಲದಲ್ಲೇಜಲನಿಧಿಗಳಾಗಲಿನೀರಿನ ಬುಗ್ಗೆಗಳಾಗಲಿ ಇಲ್ಲದಿರುವಾಗಲೇ ನಾ ಬಂದೆ ಜನ್ಮತಾಳಿನಾನು ಹುಟ್ಟಿದೆ ಬೆಟ್ಟಗುಡ್ಡಗಳು ಬೇರೂರಿ ನಿಲ್ಲುವುದಕ್ಕೆ ಮೊದಲೇ ನಾನು ಜನಿಸಿದೆ ಭೂಮಿಯನ್ನಾಗಲಿಬೈಲನ್ನಾಗಲಿ ನೆಲದ ಅಣುರೇಣನ್ನಾಗಲಿ ಆತ ನಿರ್ಮಿಸದೆ ಇರುವಾಗಲೇನಾನು ಅಲ್ಲಿದ್ದೆ ಆತ ಆಕಾಶಮಂಡಲವನ್ನು ಸ್ಥಪಿಸುವಾಗ ಸಾಗರದ ಮೇಲೆ ಚಕ್ರಾಕಾರದ ಗೆರೆಯನ್ನು ಎಳೆಯುವಾಗಗಗನವನ್ನು ಮೇಲೆ ಸ್ಥಿರಪಡಿಸುವಾಗ ಸಾಗರದ ಸೆಲೆಗಳನ್ನು ನೆಲೆಗೊಳಿಸಿದಾಗಜಲಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಸಮೂದ್ರಕ್ಕೆ ಎಲ್ಲೆಕಟ್ಟನ್ನು ನೇಮಿಸುವಾಗ ಭೂಮಿಯ ಅಸ್ತಿಭಾರವನ್ನು ಗೊತ್ತುಮಾಡುವಾಗನಾನು ಆತನ ಬಳಿ ಕುಶಲ ಶಿಲ್ಪಿಯಂತಿದ್ದೆ ಅನುದಿನವೂ ಆತನಿಗೆ ಆನಂದವನ್ನೀಯುತ್ತಿದ್ದೆ ಸದಾ ಆತನ ಮುಂದೆ ಸಂತೋಷಪಡುತ್ತಿದ್ದೆಉಲ್ಲಾಸಿಸುತ್ತಿದ್ದೆ ಆತನ ಭುಲೋಕದಲ್ಲಿ ಹರ್ಷಿಸುತ್ತಾ ಇದ್ದೆ ಮಾನವ ಸಂತಾನದಲ್ಲಿ.

ಕೀರ್ತನೆ: 8:4--5, 6--7, 8--9

ಶ್ಲೋಕಪ್ರಭೂ ಎಮ್ಮ ಪ್ರಭೂನಿನ್ನ ನಾಮಾಮೃತಬೆಳಗಿದೆ ತನ್ನ ಮಹಿಮೆಯನು ಭುವನ ಪರ್ಯಂತ

ಎರಡನೇ ವಾಚನರೋಮನರಿಗೆ 5:1--5
ಸಹೋದರರೇವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧದಲ್ಲಿರುವ ನಾವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರೊಡನೆ ಶಾಂತಿಸಮಾಧಾನದಿಂದಿರುತ್ತೆವೆವಿಶ್ವಾಸದ ಮೂಲಕ ನಾವು ದೈವಾನುಗ್ರಹವನ್ನು ಸವಿಯುವಂತೆ ಯೇಸುಕ್ರಿಸ್ತರು ದಾರಿ ತೋರಿಸಿದರುನಾವೀಗ ನೆಲೆಗೊಂಡಿರುವುದು  ಅನುಗ್ರಹದಲ್ಲಿಯೇಆದ್ದರಿಂದಲೇದೇವರ ಮಹಿಮೆಯಲ್ಲಿ ನಾವೂ ಪಾಲುಗೊಳ್ಳುತ್ತೇವೆಂಬ ಭರವಸೆಯಿಂದ ಹೆಮ್ಮೆಪಡುತ್ತೇವೆಅಷ್ಟೇ ಅಲ್ಲನಮಗೆ ಬಂದೊದುಗುವ ಕಷ್ಟಸಂಕಟಗಳಲ್ಲೂ  ಹೆಮ್ಮೆಪಡುತ್ತೇವೆಏಕೆಂದರೆಕಷ್ಟಸಂಕಟಗಳು ಸಹನೆಯನ್ನುಸಹನೆಯು ಸದ್ಗುಣವನ್ನುಸದ್ಗುಣವು ನಂಬಿಕೆ ನಿರಿಕ್ಷೆಯನ್ನು ಬೆಳೆಸುತ್ತವೆಂದು ನಾವು ಬಲ್ಲೆವು ನಂಬಿಕೆ ನಿರಿಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲಏಕೆಂದರೆನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.

ಶುಭಸಂದೇಶಯೊವಾನ್ನ 16:12--15


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರುನಾನು ನಿಮಗೆ ಹೇಳಬೇಕಾದುದು ಇನ್ನೂ ಎಷ್ಟೋ ಇದೆಸಧ್ಯಕ್ಕೆ ಅವು ನಿಮಗೆ ಹೊರಲಾಗದ ಹೊರೆಯಾಗಬಾರದುಹೇಗೂ ಸತ್ಯಸ್ವರೂಪಿಯಾದ ಪವಿತ್ರಾತ್ಮ ಬಂದಮೇಲೆ ನಿಮ್ಮನ್ನು ಸಮಗ್ರ ಸತ್ಯದೆಡೆಗೆ ಕರೆದೊಯ್ಯುವರುಅವರು ತಮ್ಮಷ್ಟಕ್ಕೆ ತಾವೇ ಏನನ್ನೂ ಬೋಧಿಸದೆ ತಾವು ಕೇಳಿದುದನ್ನು ಕುರಿತೇ ಮಾತನಾಡುವರುಮುಂದೆ ನಡೆಯಲ್ಲಿರುವುದನ್ನೂ ನಿಮಗೆ ತಿಳಿಸುವರುಅವರುನಾನು ಹೇಳಿದವುಗಳಿಂದಲೇ ಆಯ್ದು ನಿಮಗೆ ತಿಳಿಯಪಡಿಸಿ ನನ್ನ ಮಹಿಮೆಯನ್ನು ಬೆಳಗಿಸುವರುಪಿತನಿಗೆ ಇರುವುದೆಲ್ಲವೂ ನನ್ನದೇಆದುದರಿಂದಲೇ ಪವಿತ್ರಾತ್ಮ ನಾನು ಹೇಳಿದವುಗಳಿಂದಲೇ ಆಯ್ದು ನಿಮಗೆ ತಿಳಿಯಪಡಿಸುವರೆಂದು ನಾನು ಹೇಳಿದ್ದು."

ಮನಸಿಗೊಂದಿಷ್ಟು : ನಮ್ಮ ಬುದ್ಧಿಯನ್ನು ವಿಕಾಸಗೊಳಿಸುವ ಪವಿತ್ರಾತ್ಮರ ಮಹತ್ವವನು ಯೇಸು ಇಂದು ನಮಗೆ ತಿಳಿಸುತ್ತಾರೆ. ಪವಿತ್ರಾತ್ಮರಿಗೆ ನಮ್ಮ ಬದುಕಿನಲ್ಲಿ ನಾವು ದೊಡ್ಡ ಪಾತ್ರ ಸ್ಥಳ ಕೊಟ್ಟಾಗ ನಮ್ಮ ಬದುಕು ಪಡೆದುಕೊಳ್ಳುವ ಪಾವಿತ್ರತೆ, ಸಾರ್ಥಕತೆ ಅಗಾಧ. ಪವಿತ್ರಾತ್ಮರ ವರಕ್ಕಾಗಿ ನಮ್ಮ ಹೃದಯ ಸದಾ ಹಾತೊರೆಯಲಿ.

ಪ್ರಶ್ನೆ : ಪವಿತ್ರಾತ್ಮರಿಗಾಗಿ ನಾವೆಷ್ಟು ಹಾತೊರೆದಿದ್ದೇವೆ.

11.06.22 - "ಬೋಧನೆ ಮಾಡಿರಿ. ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 11:21-26; 13:1-3

ಪ್ರಭುವಿನ ಶಕ್ತಿ ಅವರೊಡನೆ ಇತ್ತು. ಜನರು ಬಹುಸಂಖ್ಯೆಯಲ್ಲಿ ಪ್ರಭುವಿನಲ್ಲಿ ವಿಶ್ವಾಸವಿಟ್ಟು ಅವರ ಭಕ್ತರಾದರು. ಈ ಸಮಾಚಾರ ಜೆರುಸಲೇಮಿನ ಧರ್ಮಸಭೆಗೆ ತಲುಪಿತು. ಬಾರ್ನಬನನ್ನು ಅಂತಿಯೋಕ್ಯಕ್ಕೆ ಅವರು ಕಳುಹಿಸಿದರು. ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು. ಬಾರ್ನಬನು ಸತ್ಪುರುಷನು, ಪವಿತ್ರಾತ್ಮಭರಿತನು ಹಾಗೂ ಅಗಾಧ ವಿಶ್ವಾಸವುಳ್ಳವನು. ಅನೇಕ ಜನರು ಪ್ರಭುವಿನ ಅನುಯಾಯಿಗಳಾದರು. ಅನಂತರ ಬಾರ್ನಬನು ಸೌಲನನ್ನು ಹುಡುಕಿಕೊಂಡು ತಾರ್ಸಕ್ಕೆ ಹೋದನು. ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು-ಅಂತಿಯೋಕ್ಯದಲ್ಲೇ. ಅಂತಿಯೋಕ್ಯದ ಧರ್ಮಸಭೆಯಲ್ಲಿ ಕೆಲವು ಪ್ರವಾದಿಗಳೂ ಬೋಧಕರೂ ಇದ್ದರು. ಅವರಾರೆಂದರೆ: ಬಾರ್ನಬ, ಕಾಳನೆಂದು ಕರೆಯಲಾದ ಸಿಮೆಯೋನ್, ಸಿರೇನಿನ ಲೂಸಿಯಸ್, ಸಾಮಂತ ಹೆರೋದನ ಬಾಲ್ಯಸ್ನೇಹಿತ ಮೆನಹೇನ ಮತ್ತು ಸೌಲ ಒಂದು ದಿನ ಅವರು ದೇವಾರಾಧನೆಯಲ್ಲೂ ಉಪವಾಸ ವ್ರತದಲ್ಲೂ ನಿರತರಾಗಿದ್ದಾಗ ಪವಿತ್ರಾತ್ಮ, “ಬಾರ್ನಬ ಮತ್ತು ಸೌಲರನ್ನು ನಾನು ಯಾವ ಕಾರ್ಯಕ್ಕಾಗಿ ಕರೆದಿದ್ದೇನೋ ಆ ಕಾರ್ಯಕ್ಕಾಗಿ ವಿೂಸಲಾಗಿಡಿ,” ಎಂದರು. ಅಂತೆಯೇ ಅವರು ಉಪವಾಸವಿದ್ದು, ಪ್ರಾರ್ಥನೆ ಮಾಡಿ, ಇವರಿಬ್ಬರ ಮೇಲೆ ಹಸ್ತನಿಕ್ಷೇಪಮಾಡಿ ಕಳುಹಿಸಿಕೊಟ್ಟರು.

ಕೀರ್ತನೆ: 98:1, 2-3, 3-4, 5-6

ಶ್ಲೋಕ: ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ದಾರಕಾ ಶಕ್ತಿಯನು

ಶುಭಸಂದೇಶ: ಮತ್ತಾಯ 10: 7-13

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: " ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆ ಮಾಡಿರಿ. ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ, ದೆವ್ವಗಳನ್ನು ಬಿಡಿಸಿರಿ. ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿ. ಜೇಬಿನಲ್ಲಿ ಚಿನ್ನ, ಬೆಳ್ಳಿ, ತಾಮ್ರವನ್ನಾಗಲಿ, ಪ್ರಯಾಣಕ್ಕೆಂದು ಜೋಳಿಗೆಯನ್ನಾಗಲಿ, ಎರಡು ಅಂಗಿಗಳನ್ನಾಗಲಿ, ಕಾಲಿಗೆ ಕೆರವನ್ನಾಗಲಿ, ಕೈಗೆ ದಂಡವನ್ನಾಗಲಿ ತೆಗೆದುಕೊಳ್ಳಬೇಡಿ. ಏಕೆಂದರೆ, ದುಡಿಮೆಗಾರನು ಜೀವನಾಧಾರಕ್ಕೆ ಬಾಧ್ಯನು. "ನೀವು ಒಂದು ಪಟ್ಟಣಕ್ಕಾಗಲಿ, ಹಳ್ಳಿಗಾಗಲಿ ಹೋದಾಗ, ಅಲ್ಲಿ ನಿಮ್ಮನ್ನು ಬರಮಾಡಿಕೊಳ್ಳಲು ಯೋಗ್ಯನು ಯಾರೆಂದು ಕಂಡುಹಿಡಿಯಿರಿ. ಅಲ್ಲಿಂದ ಮುಂದಕ್ಕೆ ಸಾಗುವವರೆಗೂ ಅವನಲ್ಲೇ ತಂಗಿರಿ. ನೀವು ಒಂದು ಮನೆಗೆ ಹೋದಾಗ, "ಈ ಮನೆಗೆ ಶುಭವಾಗಲಿ!" ಎಂದು ಹರಸಿರಿ. ಆ ಮನೆಯವರು ನಿಮ್ಮನ್ನು ಸ್ವಾಗತಿಸಿದರೆ, ನಿಮ್ಮ ಆಶೀರ್ವಾದ ಅವರ ಮೇಲೆ ನೆಲಸಲಿ. ನಿಮ್ಮನ್ನು ಸ್ವಾಗತಿಸದೆ ಹೋದರೆ, ನಿಮ್ಮ ಆಶೀರ್ವಾದ ನಿಮಗೇ ಹಿಂದಿರುಗಲಿ."

10.06.22 - "ನಿನ್ನ ಇಡೀ ದೇಹ ನರಕಕ್ಕೆ ತುತ್ತಾಗುವುದಕ್ಕಿಂತ ನಿನ್ನ ಒಂದು ಅಂಗ ನಾಶವಾಗುವುದೇ ಲೇಸು"

ಮೊದಲನೇ ವಾಚನ: 1 ಅರಸುಗಳು 19:9, 11-16

ಎಲೀಯನು ದೇವಗಿರಿಯಾದ ಹೋರೇಬನ್ನು ಮುಟ್ಟಿ ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ ಇನ್ನೊಮ್ಮೆ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಸರ್ವೇಶ್ವರನ ಮುಂದೆ ನಿಲ್ಲು,” ಎಂದು ವಾಣಿಯಾಯಿತು; ಆಹಾ! ಸರ್ವೇಶ್ವರ ಅಲ್ಲೇ ಹಾದುಹೋದರು, ಅವರ ಮುಂದೆ ಪರ್ವತಗಳನ್ನು ಭೇದಿಸಿ ಬಂಡೆಗಳನ್ನು ಪುಡಿಪುಡಿಮಾಡುವಂಥ ದೊಡ್ಡ ಬಿರುಗಾಳಿ ಬೀಸಿತು; ಸರ್ವೇಶ್ವರ ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವುಂಟಾಯಿತು; ಅದರಲ್ಲೂ ಅವರಿರಲಿಲ್ಲ. ಭೂಕಂಪವಾದನಂತರ ಸಿಡಿಲು ಉಂಟಾಯಿತು; ಅದರಲ್ಲಿಯೂ ಸರ್ವೇಶ್ವರ ಇರಲಿಲ್ಲ. ಕಡೆಗೊಂದು ಮೆಲುದನಿ! ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮುಖವನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ, ನೀನು ಇಲ್ಲೇನು ಮಾಡುತ್ತಿರುವೆ?” ಎಂದು ವಾಣಿ ಕೇಳಿಸಿತು. ಅದಕ್ಕೆ ಅವನು, “ಸೇನಾಧೀಶ್ವರರಾದ ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದು ಇದ್ದಾರೆ,” ಎಂದು ಉತ್ತರಕೊಟ್ಟನು. ಆಗ ಸರ್ವೇಶ್ವರ, “ನೀನು ಬಂದ ದಾರಿಯಲ್ಲೇ ಹಿಂದಿರುಗಿ ದಮಸ್ಕದ ಮರುಭೂಮಿಗೆ ಹೋಗು; ಅಲ್ಲಿಂದ ಪಟ್ಟಣದೊಳಗೆ ಹೋಗಿ ಹಜಾಯೇಲನನ್ನು ಸಿರಿಯಾದವರ ಅರಸನನ್ನಾಗಿ ಅಭಿಷೇಕಿಸು; ನಿಂಷಿಯ ಮಗ ಯೇಹುವನ್ನು, ಇಸ್ರಯೇಲರ ಅರಸನನ್ನಾಗಿ ಅಭಿಷೇಕಿಸು. ಅಬೇಲ್ ಮಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನ್ನ ಉತ್ತರಾಧಿಕಾರಿಯಾದ ಪ್ರವಾದಿಯನ್ನಾಗಿ ಅಭಿಷೇಕಿಸು." ಎಂದು ಹೇಳಿದನು.

ಕೀರ್ತನೆ: 27:7-8, 8-9, 13-14

ಶ್ಲೋಕ: ನಿಮ್ಮ ಮುಖದರುಶನವನು ಪ್ರಭೂ ಅರಸುವೆನು

ಶುಭಸಂದೇಶ: ಮತ್ತಾಯ 5:27-32

ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: “ವ್ಯಭಿಚಾರ ಮಾಡಕೂಡದು ಎಂಬ ನಿಯಮವನ್ನು ನೀವು ಕೇಳಿದ್ದೀರಿ; ಆದರೆ ನಾನು ಹೇಳುತ್ತೇನೆ, ಕೇಳಿ; ಪರಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ತನ್ನ ಹೃದಯದಲ್ಲಿ ಆಕೆಯೊಡನೆ ಆಗಲೇ ವ್ಯಭಿಚಾರ ಮಾಡಿದವನೇ ಆಗುತ್ತಾನೆ. ನಿನ್ನ ಬಲಗಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತೆಸೆದುಬಿಡು; ನಿನ್ನ ಇಡೀ ದೇಹ ನರಕಕ್ಕೆ ತುತ್ತಾಗುವುದಕ್ಕಿಂತ ನಿನ್ನ ಒಂದು ಅಂಗ ನಾಶವಾಗುವುದೇ ಲೇಸು. ನಿನ್ನ ಬಲಗೈ ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಬಿಸಾಡಿಬಿಡು; ನಿನ್ನ ಇಡೀ ದೇಹ ನರಕದ ಪಾಲಾಗುವುದಕ್ಕಿಂತ ಒಂದು ಅವಯವ ನಾಶವಾಗುವುದು ಎಷ್ಟೋ ಮೇಲು.” “ಇದಲ್ಲದೆ, ‘ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ವಿವಾಹ ವಿಚ್ಛೇದನ ಪತ್ರವನ್ನು ಅವಳಿಗೆ ಕೊಡಲಿ,’ ಎಂದು ವಿಧಿಸಲಾಗಿದೆ. ಆದರೆ ನಾನೀಗ ನಿಮಗೆ ಹೇಳುತ್ತೇನೆ ಕೇಳಿ; ತನ್ನ ಹೆಂಡತಿಯ ದುರ್ನಡತೆಯ ಕಾರಣದಿಂದಲ್ಲದೆ, ಅವಳನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರಿಣಿಯಾಗುವುದಕ್ಕೆ ಕಾರಣನಾಗುತ್ತಾನೆ; ಅಲ್ಲದೆ ಗಂಡಬಿಟ್ಟವಳನ್ನು ಮದುವೆಯಾಗುವವನು ಕೂಡ ವ್ಯಭಿಚಾರಿಯಾಗುತ್ತಾನೆ.”

09.06.22

ಮೊದಲನೇ ವಾಚನ: 1 ಅರಸುಗಳು 18:41-46

ಅನಂತರ ಎಲೀಯನು ಆಹಾಬನಿಗೆ, “ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ; ದೊಡ್ಡ ಮಳೆಯ ಶಬ್ದವು ಕೇಳಿಸುತ್ತದೆ,” ಎಂದನು. ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ, ಎಲೀಯನು ಕರ್ಮೆಲಿನ ತುದಿಗೆ ಹೋಗಿ, ಅಲ್ಲಿ ನೆಲದ ಮೇಲೆ ಬಿದ್ದುಕೊಂಡು, ಮೊಣಕಾಲಿನ ಮಧ್ಯೆ ತಲೆಯನ್ನಿಟ್ಟನು. ಅವನು ತನ್ನ ಸೇವಕನಿಗೆ, “ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು,” ಎಂದು ಆಜ್ಞಾಪಿಸಿದನು. ಸೇವಕನು ಹೋಗಿ, ನೋಡಿಬಂದು ಏನೂ ತೋರುವುದಿಲ್ಲವೆಂದು ಹೇಳಿದನು. ಹೀಗೆ ಅವನನ್ನು ಏಳುಸಾರಿ ಕಳುಹಿಸಿದನು. ಏಳನೆಯ ಸಾರಿ ಆ ಸೇವಕನು, “ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಲಿದೆ,” ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ, “ನೀನು ಹೋಗಿ ಅಹಾಬನಿಗೆ, ‘ಬೇಗನೆ ರಥವನ್ನು ಹೂಡಿಸಿಕೊಂಡು, ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು’ ಎಂದು ಹೇಳು,” ಎಂದನು. ತುಸು ಹೊತ್ತಿನಲ್ಲಿಯೇ ಆಕಾಶವು ಕಾರ್ಮೋಡಗಾಳಿಗಳಿಂದ ತುಂಬಿ ದೊಡ್ಡ ಮಳೆ ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕುಳಿತುಕೊಂಡು ಜೆಸ್ರೀಲಿಗೆ ಹೋದನು. ಸರ್ವೇಶ್ವರನ ಹಸ್ತ ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಜೆಸ್ರೀಲನ್ನು ಸೇರಿದನು.

ಕೀರ್ತನೆ: 65:10,11, 12-13
ಶ್ಲೋಕ: ಪ್ರಭುವೇ, ಸಿಯೋನಿನಲ್ಲಿ ಸಲ್ಲತಕ್ಕವು ನಿನಗೆ ಸ್ತುತಿಸ್ತೋತ್ರಗಳು. 

ಶುಭಸಂದೇಶ: ಮತ್ತಾಯ 5: 20-26

ಧರ್ಮಶಾಸ್ತ್ರಿಗಳ ಹಾಗೂ ಫರಿಸಾಯರ ಧರ್ಮನಿಷ್ಠೆಗಿಂತ ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ ಎಂಬುದು ನಿಶ್ಚಯ." ಕೋಪ ಕೊಲೆಗೆ ಮೂಲ "‘ನರಹತ್ಯೆ ಮಾಡಬೇಡ; ನರಹತ್ಯೆ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನು’ ಎಂದು ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ: ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು. ಆದಕಾರಣ, ಬಲಿಪೀಠದ ಮುಂದೆ ದೇವರಿಗೆ ಕಾಣಿಕೆಯನ್ನು ಅರ್ಪಿಸಲಿರುವಾಗ, ನಿನ್ನ ಸೋದರನಿಗೆ ನಿನ್ನ ಮೇಲೆ ಏನೋ ಮನಸ್ತಾಪವಿದೆ ಎಂಬುದು ನಿನ್ನ ನೆನಪಿಗೆ ಬಂದರೆ, ನಿನ್ನ ಕಾಣಿಕೆಯನ್ನು ಆ ಬಲಿಪೀಠದ ಮುಂದೆಯೇ ಇಟ್ಟುಬಿಡು. ಮೊದಲು ಹೋಗಿ ನಿನ್ನ ಸೋದರನೊಡನೆ ಸಮಾಧಾನಮಾಡಿಕೊ, ಅನಂತರ ಬಂದು ನಿನ್ನ ಕಾಣಿಕೆಯನ್ನು ಒಪ್ಪಿಸು." "ನಿನ್ನ ಎದುರಾಳಿ ನಿನ್ನನ್ನು ನ್ಯಾಯಸ್ಥಾನಕ್ಕೆ ಎಳೆಯುವಾಗ ಮಾರ್ಗಮಧ್ಯದಲ್ಲೇ ಅವನೊಡನೆ ಬೇಗ ಸಂಧಾನಮಾಡಿಕೊ. ಇಲ್ಲದಿದ್ದರೆ, ಅವನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿ ನಿನ್ನನ್ನು ಪೋಲೀಸರ ವಶಕ್ಕೆ ಬಿಡಬಹುದು. ಅನಂತರ ನಿನಗೆ ಸೆರೆವಾಸ ಪ್ರಾಪ್ತವಾದೀತು! ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಬಿಡಿಕಾಸನ್ನೂ ಬಿಡದೆ ಎಲ್ಲವನ್ನೂ ತೆರಬೇಕಾಗುವುದು. ಇದನ್ನು ನೆನಪಿನಲ್ಲಿಡು."

08.06.22 - “ಮೋಶೆಯ ಧರ್ಮಶಾಸ್ತ್ರವನ್ನಾಗಲಿ, ಪ್ರವಾದಿಗಳ ಪ್ರವಚನಗಳನ್ನಾಗಲಿ ರದ್ದು ಮಾಡಲು ನಾನು ಬಂದೆನೆಂದು ತಿಳಿಯಬೇಡಿ"

ಮೊದಲನೇ ವಾಚನ: 1 ಅರಸುಗಳು  18:20-39


ಅಹಾಬನು ಇಸ್ರಯೇಲರನ್ನೂ ಎಲ್ಲಾ ಪ್ರವಾದಿಗಳನ್ನೂ ಅಲ್ಲಿಗೆ ಕರೆಯಿಸಿದನು. ಎಲೀಯನು ಜನರೆಲ್ಲರ ಬಳಿಗೆ ಹೋಗಿ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಸರ್ವೇಶ್ವರಸ್ವಾಮಿ ನಿಮಗೆ ದೇವರಾಗಿದ್ದರೆ ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ,” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡು, ಅವನು ಮತ್ತೆ ಅವರಿಗೆ, “ಸರ್ವೇಶ್ವರನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತುಮಂದಿ ಇದ್ದಾರೆ. ಅವರು ಎರಡು ಹೋರಿಗಳನ್ನು ನಮ್ಮ ಬಳಿಗೆ ತರಲಿ; ಅವುಗಳಲ್ಲೊಂದನ್ನು ಆರಿಸಿಕೊಂಡು, ಕಡಿದು ತುಂಡುಮಾಡಿ ಕಟ್ಟಿಗೆಯ ಮೇಲಿಡಲಿ; ಆದರೆ ಬೆಂಕಿ ಹೊತ್ತಿಸಬಾರದು. ನಾನೂ ಇನ್ನೊಂದು ಹೋರಿಯನ್ನು ಹಾಗೆಯೇ ಕಡಿದು ಬೆಂಕಿ ಹೊತ್ತಿಸದೆ ಕಟ್ಟಿಗೆಯ ಮೇಲಿಡುವೆನು. ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಅನಂತರ ನಾನು ಸರ್ವೇಶ್ವರನ ಹೆಸರು ಹೇಳಿ ಪ್ರಾರ್ಥಿಸುವೆನು. ಅವರಿಬ್ಬರಲ್ಲಿ ಯಾರು ಆಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದು ನಿಶ್ಚಯಿಸೋಣ,” ಎಂದನು. ಜನರೆಲ್ಲರು, “ಸರಿ, ನೀನು ಹೇಳಿದಂತೆಯೇ ಆಗಲಿ,” ಎಂದು ಉತ್ತರಕೊಟ್ಟರು. ಆಗ ಎಲೀಯನು ಬಾಳನ ಪ್ರವಾದಿಗಳಿಗೆ, “ನೀವು ಹೆಚ್ಚುಮಂದಿ ಇರುವುದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು, ಅದನ್ನು ಸಿದ್ಧಪಡಿಸಿ, ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಆದರೆ ಬೆಂಕಿಯನ್ನು ಹೊತ್ತಿಸಕೂಡದು,” ಎಂದನು. ಅಂತೆಯೇ ತರಲಾದ ಹೋರಿಗಳಲ್ಲಿ ಒಂದನ್ನು ಅವರು ತೆಗೆದುಕೊಂಡು ಸಿದ್ಧಪಡಿಸಿದರು. ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ, ನಮಗೆ ಕಿವಿಗೊಡು,” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರು. ಆದರೆ ಯಾವ ವಾಣಿಯೂ ಕೇಳಿಸಲಿಲ್ಲ; ಅವರು ಪೀಠದ ಸುತ್ತಲೂ ಕುಣಿದಾಡಿದರು. ಆದರೂ ಯಾರೂ ಉತ್ತರಕೊಡಲಿಲ್ಲ. ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿದನು: “ಗಟ್ಟಿಯಾಗಿ ಕೂಗಿರಿ; ಅವನು ದೇವರಲ್ಲವೆ? ಈಗ ಒಂದು ವೇಳೆ ಅವನು ಧ್ಯಾನದಲ್ಲಿ ಇರಬಹುದು; ಇಲ್ಲವೇ, ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು; ಇಲ್ಲದಿದ್ದರೆ, ನಿದ್ರೆಮಾಡುತ್ತಿರಬೇಕು; ಎಚ್ಚರವಾಗಲಿ,” ಎಂದು ಹೇಳಿದನು. ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ಧತಿಯ ಪ್ರಕಾರ ಈಟಿಕತ್ತಿಗಳಿಂದ ರಕ್ತಸೋರುವಷ್ಟು ಗಾಯಮಾಡಿಕೊಂಡರು. ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಿದ್ದರು. ಆದರೂ ಯಾವ ವಾಣಿಯೂ ಕೇಳಿಸಲಿಲ್ಲ; ಯಾವನೂ ಅವರಿಗೆ ಉತ್ತರಕೊಡಲಿಲ್ಲ; ಅವರನ್ನು ಯಾವನೂ ಲಕ್ಷಿಸಲೂ ಇಲ್ಲ. ಅನಂತರ ಎಲೀಯನು ಜನರೆಲ್ಲರನ್ನು ಹತ್ತಿರಕ್ಕೆ ಕರೆದನು; ಅವರು ಬಂದರು. ಹಾಳಾಗಿದ್ದ ಅಲ್ಲಿನ ಸರ್ವೇಶ್ವರನ ಪೀಠವನ್ನು ದುರಸ್ತು ಮಾಡಿಸಿದನು. ಸರ್ವೇಶ್ವರನಿಂದ ‘ಇಸ್ರಯೇಲ್’ ಎಂಬ ಹೆಸರು ಹೊಂದಿದ ಯಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಸರ್ವೇಶ್ವರನ ಹೆಸರಿಗಾಗಿ ಒಂದು ಪೀಠವನ್ನು ಕಟ್ಟಿಸಿದನು. ಅದರ ಸುತ್ತಲೂ ಇಪ್ಪತ್ತು ಸೇರು ಬೀಜವರೀ ನೆಲವನ್ನು ಅಗಿಸಿ ಕಾಲುವೆ ಮಾಡಿಸಿದನು. ಕಟ್ಟಿಗೆಯನ್ನು ಪೀಠದ ಮೇಲೆ ಪೇರಿಸಿ, ಹೋರಿಯನ್ನು ವಧಿಸಿ ತುಂಡುಮಾಡಿ, ಅದರ ಮೇಲೆ ಇಟ್ಟನು. ಅನಂತರ ಜನರಿಗೆ, “ನಾಲ್ಕು ಕೊಡ ನೀರು ತಂದು ಬಲಿಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಹೊಯ್ಯಿರಿ,” ಎಂದು ಆಜ್ಞಾಪಿಸಿದನು. ಅವರು ಅಂತೆಯೇ ತೆಗೆದುಕೊಂಡು ಬಂದರು. “ಇನ್ನೊಂದು ಸಾರಿ ತನ್ನಿ,” ಎಂದು ಹೇಳಿದನು. ಅವರು ಇನ್ನೊಮ್ಮೆ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರ ಆಜ್ಞಾಪಿಸಲು ಅವರು ಮತ್ತೊಮ್ಮೆ ತಂದು ಸುರಿದರು. ನೀರು ವೇದಿಯ ಸುತ್ತಲೂ ಹರಿಯಿತು. ಇದಲ್ಲದೆ, ಅವನು ಕಾಲುವೆಯನ್ನೂ ನೀರಿನಿಂದ ತುಂಬಿಸಿದನು. ಸಂಧ್ಯಾನೈವೇದ್ಯದ ಹೊತ್ತಿಗೆ, ಪ್ರವಾದಿ ಎಲೀಯನು ಪೀಠದ ಹತ್ತಿರ ಬಂದು, “ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರೇ, ಸರ್ವೇಶ್ವರಾ, ನೀವೊಬ್ಬರೇ ಇಸ್ರಯೇಲರ ದೇವರಾಗಿರುತ್ತೀರಿ ಎಂಬುದನ್ನು, ನಾನು ನಿನ್ನ ದಾಸನಾಗಿರುತ್ತೇನೆಂಬುದನ್ನು ಹಾಗು ಇದನ್ನೆಲ್ಲಾ ನಿಮ್ಮ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನು ಈ ದಿನ ತೋರಿಸಿಕೊಡಿ. ನಮಗೆ ಕಿವಿಗೊಡಿ; ಸರ್ವೇಶ್ವರಾ ನಮಗೆ ಕಿವಿಗೊಡಿ; ಸರ್ವೇಶ್ವರನಾದ ನೀವೊಬ್ಬರೇ ದೇವರು ಹಾಗು ಈ ಜನರ ಮನಸ್ಸನ್ನು ನಿಮ್ಮಕಡೆಗೆ ತಿರುಗಿಸಿಕೊಳ್ಳುವವರು ಆಗಿರುತ್ತೀರಿ ಎಂಬುದನ್ನು ಇವರಿಗೆ ತಿಳಿಯಪಡಿಸಿ,” ಎಂದು ಪ್ರಾರ್ಥಿಸಿದನು. ಕೂಡಲೆ ಸರ್ವೇಶ್ವರನ ಕಡೆಯಿಂದ ಬೆಂಕಿ ಇಳಿದುಬಂದು ಬಲಿಮಾಂಸವನ್ನೂ ಕಟ್ಟಿಗೆ ಕಲ್ಲುಮಣ್ಣುಗಳನ್ನೂ ದಹಿಸಿಬಿಟ್ಟಿತು. ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಬೋರಲಬಿದ್ದರು; “ಸರ್ವೇಶ್ವರನೇ ದೇವರು, ಸರ್ವೇಶ್ವರನೇ ದೇವರು,” ಎಂದು ಕೂಗಿದರು

ಕೀರ್ತನೆ: 4:2-3, 4-5, 7-8

ಶ್ಲೋಕ: ನೀಡು ದೇವಾ, ರಕ್ಷಣೆಯನು, ನಾ ನಿನಗೆ ಶರಣಾಗತನು

ಶುಭಸಂದೇಶ: ಮತ್ತಾಯ 5:17-19

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ಮೋಶೆಯ ಧರ್ಮಶಾಸ್ತ್ರವನ್ನಾಗಲಿ, ಪ್ರವಾದಿಗಳ ಪ್ರವಚನಗಳನ್ನಾಗಲಿ ರದ್ದು ಮಾಡಲು ನಾನು ಬಂದೆನೆಂದು ತಿಳಿಯಬೇಡಿ. ರದ್ದುಮಾಡಲು ಅಲ್ಲ, ಅವುಗಳನ್ನು ಸಿದ್ಧಿಗೆ ತರಲು ಬಂದಿದ್ದೇನೆ. ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಹೀಗಿರುವಲ್ಲಿ, ಅದರ ಆಜ್ಞೆಗಳಲ್ಲಿ ಅತಿ ಚಿಕ್ಕದೊಂದನ್ನು ಮೀರುವವನು, ಮೀರುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಅತ್ಯಲ್ಪನೆಂದು ಪರಿಗಣಿತನಾಗುವನು; ಧರ್ಮಶಾಸ್ತ್ರವನ್ನು ಪಾಲಿಸುವವನು, ಪಾಲಿಸುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು."

11.09.2026 - ಶುಕ್ರವಾರIIಇಂದಿನ ಬೈಬಲ್ ವಾಚನಗಳುIIಕುರುಡನು ಕುರುಡನಿಗೆ ದಾರಿ ತೋರಿಸಲಾದೀತೆ?

  ಮೊದಲನೇ ವಾಚನ: 1 ಕೊರಿಂಥಿಯರಿಗೆ 9:16-19, 22-27 ಸಹೋದರರೇ, ಶುಭಸಂದೇಶವನ್ನು ನಾನು ಸಾರುತ್ತಿದ್ದೇನೆಂದು ಕೊಚ್ಚಿಕೊಳ್ಳುವುದಕ್ಕೂ ನನಗೆ ಆಸ್ಪದವಿಲ್ಲ. ಏಕೆಂದರೆ, ಸಾರ...