29.12.23 - "ನಿನ್ನ ಮಾತು ಸರ್ವೇಶ್ವರಾ, ನೆರವೇರಿತಂದು ಇನ್ನು ತೆರಳಬಿಡು ಶಾಂತಿಯಿಂದ"

ಮೊದಲನೇ ವಾಚನ: 1 ಯೊವಾನ್ನ  2:3-11

ನಾವು ದೇವರ ಆಜ್ಞೆಗಳನ್ನು ಕೈಗೊಂಡುನಡೆದರೆ ಅದರಿಂದಲೇ ಅವರ ಅರಿವು ನಮಗಿದೆ ಎಂದು ಖಚಿತವಾಗುತ್ತದೆ. ದೇವರನ್ನು ಬಲ್ಲೆನೆಂದು ಹೇಳಿಕೊಳ್ಳುತ್ತಾಅವರ ಆಜ್ಞೆಗಳನ್ನು ಕೈಗೊಳ್ಳದೆ ಇರುವವನು ಸುಳ್ಳುಗಾರ ಮತ್ತು ಸತ್ಯವೆಂಬುದೇ ಅವನಲ್ಲಿ ಇರುವುದಿಲ್ಲ. ಆದರೆ ದೇವರ ವಾಕ್ಯವನ್ನು ಕೈಗೊಂಡು ನಡೆಯುವವನಲ್ಲಿ ಪ್ರೀತಿ ನಿಜಕ್ಕೂ ಸಿದ್ಧಿಗೆ ಬದಿರುತ್ತದೆ. ತಾನು ದೇವರಲ್ಲಿ ನೆಲಸಿದ್ದೇನೆಂದು ಹೇಳುವವನು ಕ್ರಿಸ್ತಯೇಸು ಜೀವಿಸಿದಂತೆಯೇ ಜೀವಿಸಬೇಕು. ಇದರಿಂದಲೇ ನಾವು ದೇವರಲ್ಲಿ ನೆಲೆಗೊಂಡಿದ್ದೇವೆಂದು ತಿಳಿದುಕೊಳ್ಳುತ್ತೇವೆ. ಪ್ರಯರೇ, ನಾನು ನಿಮಗೆ ಬರೆಯುತ್ತಿರುವುದು ಹೊಸ ಆಜ್ಞೆಯೇನೂ ಅಲ್ಲ, ಮೊದಲಿನಿಂದಲೂ ನೀವು ಪಡೆದಿರುವ ಹಳೆಯ ಆಜ್ಞೆಯೇ ಸರಿ.ಅದರ ನೈಜಗುಣವು ನೀವು ಈಗಾಗಲೇ ಕೇಳಿರುವ ಸಂದೇಶ. ಆದರೂ ನಾನೀಗ ನಿಮಗೆ ಬರೆಯುತ್ತಿರುವುದು ಒಂದು ವಿಧದಲ್ಲಿ ಹೊಸ ಆಜ್ಞೆಯೇ ಸರಿ. ಅದರ ನೈಜಗುಣವು ಕ್ರಿಸ್ತಯೇಸುವಿನಲ್ಲಿ ಬೆಳಗಿದಂತೆ, ನಿಮ್ಮ ಜೀವನದಲ್ಲೂ ಬೆಳಗುತ್ತದೆ. ಏಕೆಂದರೆ, ಕತ್ತಲು ಕಳೆದುಹೋಗುತ್ತಿದೆ; ನಿಜವಾದ ಬೆಳಕು ಈಗಾಗಲೇ ಪ್ರಕಾಶಿಸುತ್ತಿದೆ. "ನಾನು ಬೆಳಕಿನಲ್ಲಿದ್ದೇನೆ" ಎಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಇನ್ನೂ ಕತ್ತಲಲ್ಲೇ ಇದ್ದಾನೆ. ತನ್ನ ಸಹೋದರನನ್ನು ಪ್ರೀತಿಸುವವನಾದರೋ ಬೆಳಕಿನಲ್ಲಿ ನೆಲೆಗೊಂಡಿರುತ್ತಾನೆ. ಎಡವಿ ಪಾಪದಲ್ಲಿ ಬೀಳಿಸುವಂಥದ್ದೇನೂ ಅವನಲ್ಲಿ ಇರದು, ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲಲ್ಲಿ ಇದ್ದಾನೆ; ಕತ್ತಲಲ್ಲೇ ನಡೆಯುತ್ತಾನೆ. ಕತ್ತಲು ಅವನನ್ನು ಕುರುಡಾಗಿಸಿರುವುದರಿಂದ ಎತ್ತ ಹೋಗುತ್ತಿದ್ದಾನೆಂದು ಅವನಿಗೇ ತಿಳಿಯದು.

ಕೀರ್ತನೆ: 96: 1-2, 2-3, 5-6

ಶ್ಲೋಕ: ಹರ್ಷಿಸಲಿ ಆಕಾಶವು, ಸಂತೋಷಿಸಲಿ ಭೂಲೋಕವು. 

ಶುಭಸಂದೇಶ: ಲೂಕ 2:22-35

ಮೋಶೆಯ ನಿಯಮದ ಪ್ರಕಾರ ಸೂತಕ ದಿನಗಳು ಮುಗಿದು ಶುದ್ಧೀಕರಣ ದಿನ ಬಂದಾಗ, ತಂದೆತಾಯಿಗಳು ಆ ಮಗುವನ್ನು ಎತ್ತಿಕೊಂಡು ಜೆರುಸಲೇಮಿಗೆ ಹೋದರು. ಏಕೆಂದರೆ, 'ಮೊದಲು ಜನಿಸಿದ ಪ್ರತಿಯೊಂದು ಗಂಡು ಮಗುವನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕಾಗಿತ್ತು. ಅಲ್ಲದೆ, ಧರ್ಮಶಾಸ್ತ್ರದಲ್ಲೇ ಉಲ್ಲೇಖಿಸಿರುವಂತೆ ಒಂದು ಜೋಡಿ ಬೆಳವಹಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ಬಲಿಯನ್ನಾಗಿ ಅರ್ಪಿಸಬೇಕಾಗಿತ್ತು ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರಿಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು. ಸರ್ವೇಶ್ವರ ಕಳುಹಿಸಲಿರುವ ಅಭಿಷಿಕ್ತನಾದ ಲೋಕೋದ್ಧಾರಕನ ದರ್ಶಣವಾಗುವವರಿಗೆ ತನಗೆ ಸಾವಿಲ್ಲವೆಂದು ಪವಿತ್ರಾತ್ಮರಿಂದಲೇ ಆಶ್ವಾಸನೆ ಪಡೆದಿದ್ಧನು. ಆ ಪವಿತ್ರಾತ್ಮರಿಂದ ಪ್ರೇರಿತನಾಗಿ ಅವನು ಮಹಾದೇವಾಲಯಕ್ಕೆ ಬಂದನು. ಧರ್ಮಶಾಸ್ತ್ರದ ವಿಧಿಯನ್ನು ಪೂರೈಸಲು ಬಾಲಯೇಸುವನ್ನು ತಂದೆತಾಯಿಗಳು ದೇವಾಲಕ್ಕೆ ತಂದಾಗ, ಸಿಮೆಯೋನನು ಆ ಮಗುವನ್ನು ತನ್ನ ಕೈಗಳಲ್ಲಿ ಎತ್ತಿಕೊಂಡು ದೇವರನ್ನು ಹೀಗೆಂದು ಸ್ತುತಿಸಿದನು: "ನಿನ್ನ ಮಾತು ಸರ್ವೇಶ್ವರಾ, ನೆರವೇರಿತಂದು ಇನ್ನು ತೆರಳಬಿಡು ಶಾಂತಿಯಿಂದ. ನಿನ್ನ ದಾಸನಾದ ಎನ್ನನ್ನು, ನೀನಿತ್ತ ಉದ್ಧಾರಕನನು ನಾ ಕಂಡೆ ಕಣ್ಣಾರೆ ಜನರೆಲ್ಲರ ಸಮ್ಮುಖದಲ್ಲಿ ನೀನೀತನನು ಪ್ರತ್ಯಕ್ಷಮಾಡಿರುವೆ. ಈತ ಅನ್ಯ ಜನರನ್ನು ಬೆಳಗಿಸುವ ಜ್ಯೋತಿ ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ." ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳನ್ನು ಕೇಳಿ ತಂದೆತಾಯಿಗಳು ಆಶ್ಚರ್ಯಪಟ್ಟರು. ಅವರನ್ನು  ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, "ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾವುವು. (ನಿನ್ನ ವಿಷಯದಲ್ಲಿ ಹೇಳುವುದಾದರೆ, ದುಃಖವೆಂಬ ಅಲಗೊಂದು ನಿನ್ನ ಅಂತರಂಗವನ್ನು ಸೀಳುವುದು,)" ಎಂದು ಹೇಳಿದನು.

28.12.23 - "ಈಜಿಪ್ಟ್ ದೇಶದಿಂದ ನನ್ನ ಕುಮಾರನನ್ನು ಕರೆದೆನು"

                          

ಮೊದಲನೆಯ  ವಾಚನ : ಯೊವಾನ್ನನು ಬರೆದ ಮೊದಲನೆಯ ಪತ್ರದಿಂದ ಇಂದಿನ ವಾಚನ 1:5-2:2


ಪ್ರೀಯರೇ,  ದೇವರೇ  ಬೆಳಕು,  ಅವರಲ್ಲಿ  ಕತ್ತಲು  ಎಂಬುದೇ  ಇಲ್ಲ.  ಅವರ  ಪುತ್ರನಿಂದಲೇ  ನಾವು  ಕೇಳಿದ  ಈ  ಸಂದೇಶವನ್ನು  ನಿಮಗೆ  ಸಾರುತ್ತಿದ್ದೇವೆ.  ನಾವು  ಕತ್ತಲಲ್ಲಿ  ಬಾಳುತ್ತಾ  ದೇವರೊಡನೆ  ಅನ್ಯೋನ್ಯವಾಗಿದ್ದೇವೆಂದು  ಹೇಳಿದರೆ  ನಾವು  ಸುಳ್ಳುಗಾರರು,  ಸತ್ಯಕ್ಕನುಸಾರ  ಬಾಳದವರು.  ಬದಲಿಗೆ,  ದೇವರು  ಬೆಳಕಿನಲ್ಲಿರುವಂತೆ   ನಾವೂ  ಬೆಳಕಿನಲ್ಲಿ  ನಡೆದರೆ  ನಮ್ಮಲ್ಲಿ  ಪರಸ್ಪರ  ಅನ್ಯೋನ್ಯತೆ  ಇರುತ್ತದೆ.  ಆಗ  ದೇವರ  ಪುತ್ರನಾದ  ಯೇಸುವಿನ  ರಕ್ತವು  ನಮ್ಮನ್ನು  ಎಲ್ಲ  ಪಾಪದಿಂದಲೂ  ಶುದ್ದಗೊಳಿಸುತ್ತದೆ.  ನಮ್ಮಲ್ಲಿ  ಪಾಪವಿಲ್ಲವೆಂದು  ನಾವು  ಹೇಳಿಕೊಂಡರೆ,  ನಮ್ಮನ್ನು  ನಾವೇ  ವಂಚಿಸಿಕೊಳ್ಳುತ್ತೇವೆ  ಮತ್ತು  ಸತ್ಯವೆಂಬುದೇ  ನಮ್ಮಲ್ಲಿ  ಇರುವುದಿಲ್ಲ.  ಪ್ರತಿಯಾಗಿ,  ನಮ್ಮ  ಪಾಪಗಳನ್ನು  ಒಪ್ಪಿಕೊಂಡರೆ,  ಆಗ  ನಂಬಿಗಸ್ಥರೂ  ನೀತಿವಂತರೂ  ಆದ  ದೇವರು  ನಮ್ಮ  ಪಾಪಗಳನ್ನು  ಕ್ಷಮಿಸಿ  ಎಲ್ಲಾ  ಅನೀತಿ,  ಅಧರ್ಮಗಳಿಂದ  ನಮ್ಮನ್ನು  ಶುದ್ಧೀಕರಿಸುತ್ತಾರೆ.  ನಾವು  ಪಾಪ  ಮಾಡಲಿಲ್ಲವೆಂದು  ಹೇಳಿದರೆ  ದೇವರನ್ನು  ಸುಳ್ಳುಗಾರರನ್ನಾಗಿಸುತ್ತೇವೆ  ಮತ್ತು  ಅವರ  ವಾಣಿ  ನಮ್ಮಲ್ಲಿ  ಇರುವುದಿಲ್ಲ.  ಪ್ರಿಯ  ಮಕ್ಕಳೇ,  ನೀವು  ಪಾಪಮಾಡದೆಂದೇ  ನಾನಿದನ್ನು  ನಿಮಗೆ  ಬರೆಯುತ್ತಿದ್ದೇನೆ.  ಒಂದು  ವೇಳೆ  ಯಾರಾದರೂ  ಪಾಪಮಾಡಿದ್ದೇ  ಆದರೆ  ನಮ್ಮ  ಪರವಾಗಿ  ಪಿತನ  ಬಳಿಯಲ್ಲಿ  ಬಿನ್ನಯಿಸಲು  ಒಬ್ಬರಿದ್ದಾರೆ.  ಅವರೇ  ಸತ್ಯಸ್ವರೂಪರಾದ  ಯೇಸುಕ್ರಿಸ್ತರು.  ಅವರೇ  ನಮ್ಮ  ಪಾಪಗಳನ್ನು  ನಿವಾರಿಸುವ  ಪರಿಹಾರಬಲಿಯಾಗಿದ್ದಾರೆ.  ನಮ್ಮ  ಪಾಪಗಳನ್ನು  ಮಾತ್ರವಲ್ಲ,  ಇಡೀ  ಜಗತ್ತಿನ  ಪಾಪಗಳನ್ನು  ಅವರು  ಪರಿಹರಿಸುತ್ತಾರೆ.

ಪ್ರಭುವಿನ  ವಾಕ್ಯ

ಕೀರ್ತನೆ    124: 2-3,4-5,7-8

ಶ್ಲೋಕ:  ಬೇಟೆಬಲೆಯಿಂದ  ಪಾರಾದ  ಪಕ್ಷಿಯಂತಾದೆವು | ಹರಿದುಹೋಯಿತಿದೋ  ಬಲೆಯು,  ಹಾರಿಹೋದೆವು  ನಾವು ||

1.  ಪ್ರಭು  ನಮ್ಮ  ಪರ  ಇಲ್ಲದಿದ್ದರೆ  ಏನಾಗುತ್ತಿತ್ತು?|
ಜನರೆಮಗೆ  ವಿರುದ್ಧ  ಎದ್ದಾಗ  ಏನಾಗುತ್ತಿತ್ತು?||
ಉರಿಗೊಳ್ಳುತ್ತಿದ್ದರು  ಕಡುಗೋಪದಿಂದ  ಖಂಡಿತ|
ನುಂಗಿಬಿಡುತ್ತಿದ್ದರು  ನಮ್ಮನ್ನು  ಜೀವಸಹಿತ||
ಶ್ಲೋಕ

2.  ಕೊಚ್ಚುಬಿಡುತ್ತಿತ್ತು  ನಮ್ಮನ್ನು  ಹುಚ್ಚುಪ್ರವಾಹ|
ಬಡಿದುಬಿಡುತ್ತಿತ್ತು  ನಮ್ಮನ್ನು  ರಭಸದಿಂದ  ಪೂರ||
ಮುಳುಗಿಸಿಬಿಡುತ್ತಿತ್ತು  ನಮ್ಮನ್ನು  ಮಹಾಪ್ರಳಯ||
ಶ್ಲೋಕ

3.  ಬೇಟೆಬಲೆಯಿಂದ  ಪಾರಾದ  ಪಕ್ಷಿಯಂತಾದೆವು|
ಹರಿದುಹೋಯಿತಿದೋ  ಬಲೆಯು,  ಹಾರಿಹೋದೆವು  ನಾವು||
ನಮಗುದ್ಧಾರ  ಪ್ರಭುವಿನ  ನಾಮದಲಿ|
ಭೂಮ್ಯಾಕಾಶವನು  ಸೃಜಿಸಿದಾತನಲಿ||
ಶ್ಲೋಕ

ಘೋಷಣೆ

ಅಲ್ಲೆಲೂಯ, ಅಲ್ಲೆಲೂಯ!
ಓ  ದೇವಾ  ನಿಮ್ಮನ್ನು  ಸ್ತುತಿಸುತ್ತೇವೆ,  ನೀವೇ  ನಮ್ಮ  ಪ್ರಭುವೆಂದು  ನಿಮ್ಮನ್ನು  ಅಂಗೀಕರಿಸುತ್ತೇವೆ |  ರಕ್ತ  ಸಾಕ್ಷಿಗಳ  ಮಹಿಮಾವೃಂದವು  ನಿಮ್ಮನ್ನು  ಸ್ತುತಿಸುತ್ತದೆ,  ಓ  ಪ್ರಭೂ ||
ಅಲ್ಲೆಲೂಯ!

ಶುಭಸಂದೇಶ : ಮತ್ತಾಯನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 2:13-18

ಆ  ಕಾಲದಲ್ಲಿ  ಜ್ಯೋತಿಷಿಗಳು  ಹೊರಟು  ಹೋದಮೇಲೆ  ದೇವದೂತನು  ಜೋಸೆಫನಿಗೆ  ಕನಸಿನಲ್ಲಿ  ಕಾಣಿಸಿಕೊಂಡು,  "ಏಳು,  ಹೆರೋದನು  ಮಗುವನ್ನು  ಕೊಂದುಹಾಕಲು  ಹವಣಿಸುತ್ತಿದ್ದಾನೆ.  ಮಗುವನ್ನೂ  ತಾಯಿಯನ್ನೂ  ಕರೆದುಕೊಂಡು  ಈಜಿಪ್ಟ್  ದೇಶಕ್ಕೆ  ಓಡಿಹೋಗು.  ನಾನು  ಪುನಃ  ಹೇಳುವತನಕ  ಅಲ್ಲೇ  ಇರು " ಎಂದನು.  ಅದರಂತೆ  ಜೋಸೆಫನು  ಕೂಡಲೇ  ಎದ್ದು  ಮಗುವನ್ನೂ  ತಾಯಿಯನ್ನೂ  ರಾತ್ರೋರಾತ್ರಿಯಲ್ಲೇ  ಕರೆದುಕೊಂಡು  ಈಜಿಪ್ಟಿಗೆ  ತೆರಳಿದನು.  ಹೆರೋದನು  ಸಾಯುವ ತನಕ  ಅಲ್ಲೇ  ಇದ್ದನು.  ಈ  ಪ್ರಕಾರ,  "ಈಜಿಪ್ಟ್  ದೇಶದಿಂದ  ನನ್ನ  ಕುಮಾರನನ್ನು  ಕರೆದೆನು  "ಎಂದು  ಪ್ರವಾದಿಯ  ಮುಖಾಂತರ  ಸರ್ವೇಶ್ವರನು  ಹೇಳಿದ್ದ  ಪ್ರವಚನ  ಈಡೇರಿತು.  ಜ್ಯೋತಿಷಿಗಳಿಂದ  ತಾನು  ವಂಚಿತನಾದೆ  ಎಂದು  ಅರಿತ  ಹೆರೋದನು  ರೋಷಾವೇಶಗೊಂಡನು.  ಬೆತ್ಲೆಹೇಮಿಗೂ  ಅದರ  ಸುತ್ತಮುತ್ತಲಿಗೂ  ಆಳುಗಳನ್ನು  ಕಳುಹಿಸಿದನು.  ತಾನು  ಜ್ಯೋತಿಷಿಗಳಿಂದ  ತಿಳಿದುಕೊಂಡಿದ್ದ  ಕಾಲದ  ಆಧಾರದ  ಮೇಲೆ  ಅಲ್ಲಿದ್ದ,  ಎರಡು  ವರ್ಷಗಳಿಗೆ  ಮೀರಿದ,  ಎಲ್ಲಾ  ಗಂಡುಮಕ್ಕಳನ್ನು  ಕೊಂದು  ಹಾಕಿಸಿದನು.  ಕೇಳಿಬರುತಿದೆ  ರಮಾ  ಊರಿನೊಳು  ರೋದನ,  ಗೋಳಾಟ,  ಅಘೋರ  ಆಕ್ರಂದನ;  ಕಳೆದುಕೊಂಡ  ಮಕ್ಕಳಿಗಾಗಿ  ಗೋಳಿಡುತಿಹಳು  ರಾಖೇಲಳು.  ಇನ್ನಿಲ್ಲದವುಗಳಿಗಾಗಿ  ಉಪಶಮನ  ಒಲ್ಲೆನೆನುತಿಹಳು,  "ಪ್ರವಾದಿ  ಯೆರೆಮೀಯನ  ಈ  ಪ್ರವಚನ  ಅಂದು  ಸತ್ಯವಾಯಿತು.

ಪ್ರಭುಕ್ರಿಸ್ತರ  ಶುಭಸಂದೇಶ

27.12.23 - ಸಮಾಧಿಯನ್ನು ಮೊದಲು ತಲುಪಿದ್ದ ಇನ್ನೊಬ್ಬ ಶಿಷ್ಯನೂ ಆಮೇಲೆ ಒಳಗೆ ನುಗ್ಗಿ ನೋಡಿದನು; ನೋಡಿ ನಂಬಿದನು.

ಮೊದಲನೆಯ ವಾಚನ: 1 ಯೊವಾನ್ನ 1:1-4


ನಿಮಗೆ ನಾವು ಪ್ರಚುರಪಡಿಸುವ ಸಜೀವವಾಣಿ ಆದಿಯಿಂದ ಇರುವಂಥಾದ್ದು. ಇದನ್ನು ಕಣ್ಣಾರೆ ಕಂಡಿದ್ದೇವೆ, ಕಿವಿಯಾರೆ ಕೇಳಿದ್ದೇವೆ, ಮನಸ್ಸಾರೆ ಗ್ರಹಿಸಿದ್ದೇವೆ ಮತ್ತು ಕೈಯಾರೆ ಮುಟ್ಟಿದ್ದೇವೆ. ಆ ಜೀವ ಪ್ರತ್ಯಕ್ಷವಾಯಿತು. ಅದನ್ನು ನಾವು ನೋಡಿದ್ದೇವೆ, ಆ ಬಗ್ಗೆ ಸಾಕ್ಷಿ ಹೇಳುತ್ತೇವೆ. ಪಿತನ ಬಳಿಯಿದ್ದು ನಮಗೆ ಪ್ರತ್ಯಕ್ಷವಾದಂಥ ನಿತ್ಯ ಜೀವವನ್ನು ನಿಮಗೆ ಸಾರುತ್ತೇವೆ. ಪಿತನೊಡನೆಯೂ ನಮಗಿರುವಂಥ ಅನ್ಯೋನ್ಯತೆಯಲ್ಲಿ ನೀವು ಸಹ ಭಾಗಿಗಳಾಗುವಂತೆ ನಾವು ಕಂಡುಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮ್ಮೆಲ್ಲರ ಆನಂದವು ಪರಿಪೂರ್ಣವಾಗುವಂತೆ ಇದನ್ನು ಬರೆಯುತ್ತಿದ್ದೇವೆ.

ಕೀರ್ತನೆ 97:1-2,5-6,11-12
ಶ್ಲೋಕ: ಸಜ್ಜನರೇ, ಪ್ರಭುವಿನಲ್ಲಿ ಆನಂದಿಸಿರಿ |

ಇದೆ ಪ್ರಭುವಿನ ಕೈಯಲ್ಲಿ ರಾಜ್ಯಾಧಿಕಾರ|
ಉಲ್ಲಾಸಿಸಲಿ ಧರಣಿಮಂಡಲದಾದ್ಯಂತ |
ಸಂತೋಷಿಸಲಿ ಕಡಲಿನ ದ್ವೀಪಗಳೆಲ್ಲ||
ಇವೆ ಮುಗಿಲೂ ಕಾರ್ಮೂಗಿಲೂ ಆತನ ಸುತ್ತಲು|
ನ್ಯಾಯ ನೀತಿ ಆತನ ಗದ್ದುಗೆಯಸ್ತಿವಾರಗಳು||

ಸಾರ್ವಭೌಮನಾದ ಪ್ರಭುವಿನ ಮುಂದೆ|
ಕರಗುತ್ತವೆ ಬೆಟ್ಟಗುಡ್ಡಗಳು ಮೇಣದಂತೆ||
ಘೋಷಿಸುತ್ತದೆ ಗಗನಮಂಡಲ ಆತನ ನೀತಿಯನು|
ಕಾಣುತ್ತವೆ ಸಕಲ ಜನಾಂಗ ಆತನ ಮಹಿಮೆಯನು||

ಉದಯವಾಗುವುದು ಜ್ಯೋತಿ ಸಜ್ಜನರಿಗೆ|
ಆನಂದವಿದೆ ಯಥಾರ್ಥ ಹೃದಯಿಗಳಿಗೆ||
ಸಜ್ಜನರೇ ಪ್ರಭುವಿನಲ್ಲಿ ಆನಂದಿಸಿರಿ|
ಆತನ ಶ್ರೀನಾಮವನು ಕೊಂಡಾಡಿರಿ||

ಅಲ್ಲೆಲೂಯ, ಅಲ್ಲೆಲೂಯ!

ಓ ದೇವಾ ನಿಮ್ಮನ್ನು ಸ್ತುತಿಸುತ್ತೇವೆ. ನೀವೇ ನಮ್ಮ ಪ್ರಭುವೆಂದು ನಿಮ್ಮನ್ನು ಅಂಗೀಕರಿಸುತ್ತೇವೆ | ಪ್ರೇಷಿತ ಮಹಿಮಾ ವೃಂದವು ನಿಮ್ಮನ್ನು ಸ್ತುತಿಸುತ್ತದೆ, ಓ ಪ್ರಭೂ ||

ಶುಭಸಂದೇಶ: ಯೊವಾನ್ನ 20:2-8


ಅಂದು ಭಾನುವಾರ, ಮುಂಜಾನೆ. ಇನ್ನೂ ಕತ್ತಲಾಗಿತ್ತು. ಮಗ್ದಲದ ಮರಿಯಳು ಸಮಾಧಿಯ ಬಾಗಿಲಿಗೆ ಮುಚ್ಚಲಾಗಿದ್ದ ಕಲ್ಲು ಅಲ್ಲಿಂದ ತೆಗೆದುಹಾಕಿರುವುದನ್ನು ಕಂಡಳು. ಆಗ ಆಕೆ ಸಿಮೋನ ಪೇತ್ರನ ಮತ್ತು ಯೇಸುವಿಗೆ ಆಪ್ತನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೆ ಓಡಿಬಂದು, "ಪ್ರಭುವನ್ನು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ; ಅವರನ್ನು ಎಲ್ಲಿ ಇಟ್ಟಿದ್ದಾರೋ ಗೊತ್ತಿಲ್ಲ, "ಎಂದು ಹೇಳಿದಳು. ಇದನ್ನು ಕೇಳಿ ಪೇತ್ರನೂ ಇನ್ನೊಬ್ಬ ಶಿಷ್ಯನೂ ಸಮಾಧಿಯ ಕಡೆಗೆ ಹೊರಟರು. ಇಬ್ಬರೂ ಓಡಿದರು. ಆ ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಸಮಾಧಿಯನ್ನು ಮೊದಲು ತಲುಪಿದನು. ಅವನು ಬಗ್ಗಿ ನೋಡಿದಾಗ ಅಲ್ಲಿ ನಾರುಬಟ್ಟೆಗಳು ಬಿದ್ದಿರುವುದು ಕಾಣಿಸಿತು. ಆದರೆ ಅವನು ಒಳಗೆ ನುಗ್ಗಲಿಲ್ಲ. ಅವನ ಹಿಂದೆಯೇ ಸಿಮೋನ ಪೇತ್ರನು ಬಂದು ನೆಟ್ಟಿಗೆ ಸಮಾಧಿ ಒಳಗೆ ನುಗ್ಗಿದನು; ಅಲ್ಲಿ ನಾರುಮಡಿಗಳು ಬಿದ್ದಿರುವುದನ್ನು ಕಂಡನು. ಯೇಸುವಿನ ತಲೆಗೆ ಸುತ್ತಿದ್ದ ಬಟ್ಟೆ, ಆ ನಾರುಮಡಿಗಳೊಡನೆ ಇರದೆ, ಅದನ್ನು ಮಡಚಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ಕಂಡನು. ಸಮಾಧಿಯನ್ನು ಮೊದಲು ತಲುಪಿದ್ದ ಇನ್ನೊಬ್ಬ ಶಿಷ್ಯನೂ ಆಮೇಲೆ ಒಳಗೆ ನುಗ್ಗಿ ನೋಡಿದನು; ನೋಡಿ ನಂಬಿದನು.

26.12.23

ಮೊದಲನೆಯ ವಾಚನ: ಪ್ರೇಷಿತರ ಕಾರ್ಯಕಲಾಪ 6:8-10,7:54-59

ಸ್ತೇಫನನು ದೈವಾನುಗ್ರಹದಿಂದಲೂ ಶಕ್ತಿಯಿಂದಲೂ ತುಂಬಿದ್ದನು. ಜನರ ಮಧ್ಯೆ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದನು. ಆದರೆ ಕೆಲವರು ಸ್ತೇಫನನ ವಿರೋಧಿಗಳಾಗಿದ್ದರು. ಇವರು 'ಬಿಡುಗಡೆ ಹೊಂದಿದವರು' ಎಂಬವರ ಪ್ರಾರ್ಥನಾಮಂದಿರಕ್ಕೆ ಸೇರಿದವರು. ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರೂ ಇದರ ಸದಸ್ಯರಾಗಿದ್ದರು. ಇವರೊಡನೆ ಸಿಲಿಸಿಯ ಹಾಗೂ ಏಷ್ಯಾದ ಯೆಹೂದ್ಯರೂ ಸೇರಿ ಸ್ತೇಫನನೊಂದಿಗೆ ತರ್ಕ ಮಾಡತೊಡಗಿದರು. ಆದರೆ ಸ್ತೇಫನನ ಮಾತುಗಳನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಅವನ ಮೇಲೆ ಕೋಪೋದ್ರಿಕ್ತರಾದರು. ಕಟಕಟನೆ ಹಲ್ಲುಕಡಿದರು. ಆದರೆ ಸ್ತೇಫನನು ಪವಿತ್ರಾತ್ಮ ಭರಿತನಾಗಿ ಸ್ವರ್ಗದತ್ತ ಕಣ್ಣೆತ್ತಿನೋಡಿ ದೇವರ ಮಹಿಮೆಯನ್ನೂ ಅವರ ಬಲಪಾರ್ಶ್ವದಲ್ಲಿ ನಿಂತಿರುವ ಯೇಸುವನ್ನೂ ಕಂಡು, 'ಇಗೋ, ಆಕಾಶವು ತೆರೆದಿದೆ, ನರಪುತ್ರನು ದೇವರ ಬಲಪಾರ್ಶ್ವದಲ್ಲಿ ನಿಂತಿರುವುದನ್ನು ನಾನು ನೋಡುತ್ತಿದ್ದೇನೆ, " ಎಂದನು. ಇದನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಆರ್ಭಟಿಸಿದರು; ಕಿವಿಗಳನ್ನು ಮುಚ್ಚಿಕೊಂಡರು; ಭರದಿಂದ ಅವನತ್ತ ಧಾವಿಸಿದರು. ಪಟ್ಟಣದಿಂದ ಹೊರಕ್ಕೆ ದಬ್ಬಿ ಅವನ ಮೇಲೆ ಕಲ್ಲು ತೂರಿದರು. ಸಾಕ್ಷಿಕೊಟ್ಟವರು ತಮ್ಮ ಬಟ್ಟೆಬರೆಗಳನ್ನು ತರುಣ ಸೌಲನ ವಶದಲ್ಲಿ ಇಟ್ಟಿದ್ದರು. ಅವರು ತನ್ನ ಮೇಲೆ ಕಲ್ಲುಬೀರುತ್ತಿದ್ದಾಗ ಸ್ತೇಪನನು, "ಪ್ರಭು ಯೇಸುವೇ, ನನ್ನಾತ್ಮವನ್ನು ಸ್ವೀಕರಿಸಿ, " ಎಂದು ಪ್ರಾರ್ಥಿಸಿದನು.

ಕೀರ್ತನೆ 31:2-3,5,6,7,15-16
ಶ್ಲೋಕ: ನನಗಾಧಾರ ನೀನಲ್ಲವೇ ? ನನ್ನಾತ್ಮವನು ನಿನಗೊಪ್ಪಿಸಿರುವೆ ||

ನನಗೆ ಕಿವಿಗೊಡು ಪ್ರಭು, ನನ್ನನು ಬಿಡಿಸು ಬೇಗನೆ|
ನನ್ನಾಶ್ರಯಗಿರಿ, ದುರ್ಗಸ್ಥಾನವಾಗಿರು ನೀನೇ||
ಕೈ ಹಿಡಿದು ನಡೆಸೆನ್ನನು ನಿನ್ನ ನಾಮ ನಿಮಿತ್ತ|
ನೀನೆನಗೆ ಪೊರೆಬಂಡೆ, ಸ್ಥಿರ ಕೋಟೆಕೊತ್ತಲು||

ನನಗಾಧಾರ ನೀನಲ್ಲವೇ? ನನ್ನಾತ್ಮವನು ನಿನಗೊಪ್ಪಿಸಿರುವೆ|
ನಂಬಿಗಸ್ತನಾದ ದೇವನೇ, ನೀಯೆನ್ನ ಮುಕ್ತಗೊಳಿಸಿರುವೆ||
ನಾನಾದರೋ ಪ್ರಭೂ, ಭರವಸೆಯಿಟ್ಟಿರುವುದು ನಿನ್ನಲ್ಲೇ|
ಸರ್ಷಾನಂದಗೊಳ್ಳುವೆ ನೆನೆದು ನಿನ್ನ ಅನಂತ ಪ್ರೀತಿಯನು||

ನಿನ್ನ ಕೈಯಲ್ಲಿದೆ ನನ್ನ ಇಡೀ ಜೀವಮಾನ|
ಬೆನ್ನಟ್ಟಿ ಬರುವ ವೈರಿಯಿಂದ ರಕ್ಷಿಸೆನ್ನ||
ಬೆಳಗಿಸಲಿ ದಾಸನಾದ ನಿನ್ನ ಮುಖ ತೇಜವು|
ಕಾಪಾಡಲಿ ಎನ್ನನು ನಿನ್ನನಂತ ಪ್ರೇಮವು||

ಘೋಷಣೆ ಕೀರ್ತನೆ 118:26,27
ಅಲ್ಲೆಲೂಯ, ಅಲ್ಲೆಲೂಯ!

ಪ್ರಭುವಿನ ನಾಮದಲಿ ಬರುವವನಿಗೆ ಜಯಮಂಗಳ | ಪ್ರಭುವೇ ದೇವರು, ನಮ್ಮ ಮೇಲೆ ಜ್ಯೋತಿಯನು ಬೆಳಗಿದವನು ||

ಶುಭಸಂದೇಶ: ಮತ್ತಾಯ 10:17-22

ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: ಜನರ ಬಗ್ಗೆ ಜಾಗರೂಕರಾಗಿರಿ ! ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಹಿಡಿದೊಪ್ಪಿಸುವರು. ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವರು. ನನ್ನ ನಿಮಿತ್ತ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರುಗಳ ಮುಂದೆ ಎಳೆದೊಯ್ಯುವರು. ಅವರ ಹಾಗೂ ಪರಕೀಯರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ. ನಿಮ್ಮನ್ನು ಹಿಡಿದೊಪ್ಪಿಸುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ. ಏಕೆಂದರೆ ನೀವು ಹೇಳಬೇಕಾದುದ್ದನ್ನು ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡಲಾಗುವುದು. ಆಗ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮ ಮುಖಾಂತರ ಮಾತನಾಡುವುದು. ಸಹೋದರನು ಸಹೋದರನನ್ನೇ ತಂದೆಯು ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿ ಬಿದ್ದು ಅವರನ್ನು ಕೊಲ್ಲಿಸುವರು. ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.

25.12.23 - "ಜಗತ್ತು ಉಂಟಾಗುವ ಮೊದಲೇ "ದಿವ್ಯವಾಣಿ" ಎಂಬುವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು"

  ಮೊದಲನೇ ವಾಚನ: ಯೆಶಾಯ  52:7-10 


ಶುಭಕರ ಸಮಾಚಾರವನು ತರುವ, ಶಾಂತಿಸಮಾಧಾನವನು ಸಾರುವ, ಸಂತಸದ ಸಂದೇಶವನು ಅರುಹುವ, ಜೀವೋದ್ಧಾರವನು ಪ್ರಕಟಿಸುವ, "ನಿನ್ನ ದೇವರೇ ರಾಜ್ಯಭಾರ ವಹಿಸುವ" ಎಂದು ಸಿಯೋನಿಗೆ ತಿಳಿಯಪಡಿಸುತ್ತ, ಪರ್ವತಗಳಿಂದ ಇಳಿದುಬರುವ ಶಾಂತಿದೂತನ ಪಾದಪದ್ಮಗಳು ಎಷ್ಟೊಂದು ಸಂದರ! ಆಲಿಸಿ ಕೇಳು ನಿನ್ನ ಕಾವಲುಗಾರರ ಕೂಗನು; ಸರ್ವೇಶ್ವರ ಸಿಯೋನಿಗೆ ಮರಳಿ ಬರುತ್ತಿರುವುದನು ಕಣ್ಣಾರೆ ಕಂಡು ಕೂಡಿಹಾಡುತ್ತಿಹರು ಗೀತೆಯನು. ಜೆರುಸಲೇಮಿನ ಹಾಳುಬಿದ್ದ ಪ್ರದೇಶಗಳೇ, ಜಯಕಾರಮಾಡಿ ತಟ್ಟನೆ, ಹಾಡಿರಿ ಒಟ್ಟಿಗೆ. ಬಿಡುಗಡೆ ಮಾಡಿರುವನು ಸರ್ವೇಶ್ವರ ಜೆರುಸಲೇಮನು, ತಂದಿರುವನು ತನ್ನ ಜನರಿಗೆ ಸಮಾಧಾನವನು. ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಪ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು. 

ಕೀರ್ತನೆ: 98:1, 2-3, 3-4, 5-6 

ಶ್ಲೋಕ: ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ ನಮ್ಮ ದೇವ ಸಾಧಿಸಿದ ಜಯಗಳಿಕೆ 

1.  ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು
    ಎಸಗಿಹನಾತನು ಪವಾಡ ಕಾರ್ಯಗಳನು
    ಗಳಿಸಿತಾತನ ಕೈ ಪೂತಭುಜ ಗೆಲುವನು

2.  ಪ್ರಕ್ಟಿಸಿಹನಾ ಪ್ರಭು ತನ್ನ ಮುಕ್ತಿ ವಿಧಾನವನು
    ರಾಷ್ಟ್ರಗಳಿಗೆ ತೋರಿಸಿಗನು ಜೀವೋದ್ದಾರಕಾ ಶಕ್ತಿಯನು
    ಕಂಡು ಬಂದಿತು ಜಗದ ಎಲ್ಲೆ ಎಲ್ಲೆಗೆ
    ನಮ್ಮ ದೇವ ಸಾಧಿಸಿದ ಜಯಗಳಿಕೆ

3.  ಸ್ಮರಿಸಿಕೋಂಡನಾ ಪ್ರಭು ತನ್ನ ಪ್ರೀತಿಯನು
    ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು
    ಭೂನಿವಾಸಿಗಳೇ, ಮಾಡಿರಿ ಜಯಕಾರ ಪ್ರಭುವಿಗೆ
    ಮುದದಿ ಹಾಡಿರಿ, ಮಾಡಿರಿ ಸುಮಧುರ ಭಜನೆ

4.  ಪ್ರಭುವನು ಸ್ತುತಿಸಿರಿ ಕಿನ್ನರಿಯೊಂದಿಗೆ
    ಭಜಿಸಿರಿ ಆತನನು ವಾದ್ಯಮೇಳದೊಂದಿಗೆ
    ಊದಿರಿ ಕೊಂಬನು, ತುತೂರಿಯನು

    ಉದ್ಘೋಷಿಸಿರಿ ಪ್ರಭು ರಾಜನನು

ಎರಡನೇ ವಾಚನ: ಹಿಬ್ರಿಯರಿಗೆ 1:1-6 



ಪೂರ್ವಕಾಲದಲ್ಲಿ ದೇವರು ನಮ್ಮ ಪಿತೃಗಳೊಡನೆ ಹಲವಾರು ವಿಧದಲ್ಲಿ, ಅನೇಕ ಸಾರಿ ಪ್ರವಾದಿಗಳ ಮುಖಾಂತರ ಮಾತನಾಡಿದರು. ಆದರೆ ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನು ಉಂಟುಮಾಡಿದ್ದು ಇವರ ಮುಖಾಂತರವೇ, ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ, ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ. ಹೀಗೆ ದೇವರ ಪುತ್ರನು ದೇವದೂತರಿಗಿಂತಲೂ ಶ್ರೇಷ್ಠ; ಅವರಿಗಿಂತಲೂ ಹೆಸರು ವಾಸಿಯಾದಾತ. ಎಕೆಂದರೆ, ದೇವರು ತಮ್ಮ ದೂತರಲ್ಲಿ ಯಾರಿಗಾದರೂ - "ನೀನೇ ನನ್ನ ಪುತ್ರ; ನಾನೇ ನಿನ್ನನಿಂದು ಪಡೆದವ," ಎಂದು ಎಂದಾದರೂ ಹೇಳಿದ್ದುಂಟೇ? ಅಥವಾ, "ನಾನಾತನಿಗೆ ಪಿತನು, ಆತನೆನಗೆ ಪುತ್ರನು, " ಎಂದಾಗಲಿ ಹೇಳಿದ್ದುಂಟೇ? ಇದಲ್ಲದೆ ದೇವರು ತಮ್ಮ ಚೊಚ್ಚಲ ಮಗನನ್ನು ಭೂಲೋಕಕ್ಕೆ ಕಳುಹಿಸುವಾಗ; "ದೇವದೂತರೆಲ್ಲರೂ ಆತನನ್ನು ಆರಾಧಿಸಲಿ," ಎಂದಿದ್ದಾರೆ. 

ಶುಭಸಂದೇಶ: ಯೊವಾನ್ನ 1:1-18 


ಜಗತ್ತು ಉಂಟಾಗುವ ಮೊದಲೇ "ದಿವ್ಯವಾಣಿ" ಎಂಬುವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು. ಆ ದಿವ್ಯವಾಣಿ ದೇವರೊಂದಿಗೆ ಇದ್ದರು; ಅನಾದಿಯಿಂದಲೇ ಅವರು ದೇವರೊಂದಿಗೆ ಇದ್ದರು. ದಿವ್ಯವಾಣಿಯ ಮುಖಾಂತರವೇ ಸಮಸ್ತವೂ ಉಂಟಾಯಿತು ಉಂಟಾದವುಗಳಲ್ಲಿ ಯಾವುದೂ ಆ ದಿವ್ಯವಾಣಿಯಿಂದಲ್ಲದೆ ಆದುದಲ್ಲ. ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು. ಆ ಜೀವವೇ ಮಾನವಜನಾಂಗದ ಜ್ಯೋತಿಯಾಗಿತ್ತು. ಆ ಜ್ಯೋತಿ ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲಿಗಾದರೋ  ಅದನ್ನು ನಿಗ್ರಹಿಸಲಾಗಲಿಲ್ಲ. ದೇವರು ಒಬ್ಬ ವ್ಯಕ್ತಿಯನ್ನು ಕಳುಹಿಸಿದರು. ಆತನ ಹೆಸರು ಯೊವಾನ್ನ. ಈತನು ಸಾಕ್ಷಿಕೊಡಲು ಬಂದನು. ತನ್ನ ಮುಖಾಂತರ ಸರ್ವರೂ ವಿಶ್ವಾಸಿಸುವಂತೆ ಆ ಜ್ಯೋತಿಯನ್ನು ಕುರಿತು ಸಾಕ್ಷಿ ನೀಡಿದನು. ಈತನೇ ಜ್ಯೋತಿಯಾಗಿರಲಿಲ್ಲ; ಆ ಜ್ಯೋತಿಯನ್ನು ಕುರಿತು ಸಾಕ್ಷಿ ನೀಡಲೆಂದೇ ಬಂದವನು. ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಯೋತಿ ಅವರೇ. ದಿವ್ಯವಾಣಿ ಲೋಕದಲ್ಲಿ ಇದ್ದರು, ಅವರ ಮುಖಾಂತರವೇ ಲೋಕವು ಉಂಟಾಯಿತು. ಲೋಕವಾದರೋ ಅವರನ್ನು ಅರಿತುಕೊಳ್ಳದೆ ಹೋಯಿತು. ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆ ಹೋದರು. ಕೆಲವರಾದರೋ ಅವರನ್ನು ಬರಮಾಡಿಕೊಂಡರು. ಅಂಥವರಿಗೆ, ಅಂದರೆ ಅವರಲ್ಲಿ ವಿಶ್ವಾಸ ಇಟ್ಟವರಿಗೆ, ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು. ಅಂಥವರ ಜನನವು ರಕ್ತಸಂಬಂಧದಿಂದ ಅಲ್ಲ, ಶಾರೀರಕ ಇಚ್ಛೆಯಿಂದ ಅಲ್ಲ, ಮಾನವಸಹಜ ಬಯಕೆಯಿಂದಲೂ ಅಲ್ಲ, ದೇವರಿಂದಲೇ ಆದುದು, ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು. ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮಿಾಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು. ಯೊವಾನ್ನನು ಅವರನ್ನು ಕುರಿತು ಸಾಕ್ಷಿ ನುಡಿಯುತ್ತಾ,  "ಅವರು ನನ್ನ ಬಳಿಕ ಬಂದವರಾದರೂ ನನಗಿಂತ ಮೊದಲೇ ಇದ್ದವರು; ಆದುದರಿಂದ ಅವರು ನನಗಿಂತಲೂ ಶ್ರೇಷ್ಠರು" ಎಂದು ನಾನು ಹೇಳಿದ್ದು ಅವರನ್ನು ಕುರಿತೇ," ಎಂದು ಘೋಷಿಸಿದನು. ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ. ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸುಕ್ತಿಸ್ತರ ಮುಖಾಂತರ ಬಂದವು. ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.

24.12.23

 ಮೊದಲನೇ ವಾಚನ: 2 ಸಮುವೇಲ  7:1-5, 8-12, 14, 16 


ಸರ್ವೇಶ್ವರನ ಅನುಗ್ರಹದಿಂದ ಸುತ್ತಮುತ್ತ ಇದ್ದ ವೈರಿಗಳ ಭಯ ನಿಂತುಹೋಯಿತು. ದಾವೀದನು ನೆಮ್ಮದಿಯಿಂದ ಅರಮನೆಯಲ್ಲಿ ವಾಸಿಸುತ್ತಿದ್ದನು. ಒಂದು ದಿನ ಅವನು ಪ್ರವಾದಿ ನಾತಾನನಿಗೆ, "ನೋಡು, ನಾನು ವಾಸಮಾಡುತ್ತಿರುವುದು ದೇವದಾರು ಮರದಿಂದ ಮಾಡಿದ ಅರಮನೆಯಲ್ಲಿ; ಆದರೆ ದೇವರ ಮಂಜೂಷ ಇರುವುದು ಬಟ್ಟೆಯ ಗುಡಾರದಲ್ಲಿ!" ಎಂದನು. ಅದಕ್ಕೆ ನಾತಾನನು ಸಮ್ಮತಿಸಿ, "ನಿಮಗೆ ಮನಸ್ಸಿದ್ದಂತೆ ಮಾಡಿ; ಸರ್ವೇಶ್ವರ ನಿಮ್ಮೊಡನೆ ಇದ್ದಾರೆ," ಎಂದನು. ಆದರೆ ಅದೇ ರಾತ್ರಿ ಸರ್ವೇಶ್ವರ ನಾತಾನನಿಗೆ ಹೀಗೆಂದು ಆಜ್ಞಾಪಿಸಿದರು; "ನೀನು ಹೋಗಿ ನನ್ನ ದಾಸ ದಾವೀದನಿಗೆ ತಿಳಿಸಬೇಕಾದುದು ಇದು: "ನೀನು ನನಗೊಂದು ದೇವಾಲಯವನ್ನು ಕಟ್ಟಬೇಕೆಂದಿರುವೆಯೋ? ಕುರಿಗಳ ಹಿಂದೆ ತಿರುಗಾಡುತ್ತಿದ್ದ ನಿನ್ನನ್ನು ಅಡವಿಯಿಂದ ಆಯ್ದುಕೊಂಡು ನನ್ನ ಪ್ರಜೆ ಇಸ್ರಯೇಲರ ಮೇಲೆ ನಾಯಕನನ್ನಾಗಿ ನೇಮಿಸಿದೆ. ನೀನು ಹೋದ ಕಡೆಯೆಲ್ಲಾ ನಿನ್ನ ಸಂಗಡ ಇದ್ದೆ. ನಿನ್ನ ಶತ್ರುಗಳನ್ನೆಲ್ಲ ನಿನ್ನ ಕಣ್ಮುಂದೆಯೆ ಸದೆ ಬಡಿದೆ. ಜಗದ ಮಹಾತ್ಮರ ಹೆಸರಿನಂತೆ ನಿನ್ನ ಹೆಸರನ್ನು ಪ್ರಸಿದ್ಧಗೊಳಿಸುವೆನು. ನನ್ನ ಪ್ರಜೆ ಇಸ್ರಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಇನ್ನು ಮೇಲೆ ಅವರು ಯಾವ ಭಯವೂ ಇಲ್ಲದೆ ವಾಸಿಸುವರು. ಪೂರ್ವಕಾಲದಲ್ಲಿ ನಾನು ನನ್ನ ಜನರಿಗೆ ನ್ಯಾಯಸ್ಥಾಪಕರನ್ನು ನೇಮಿಸಿದೆ. ಅಲ್ಲಿಂದೀಚಿಗೆ ಇಸ್ರಯೇಲರು ಶೋಷಣೆಗೆ ಗುರಿಯಾದರು. ಆದರೆ ಇನ್ನು ಮುಂದೆ ಆಗದು. ನೀನು ಶತ್ರು ಭಯವಿಲ್ಲದೆ, ಸುಖದಿಂದಿರುವಂತೆ ಮಾಡುವೆನು. ಅದು ಮಾತ್ರ ಅಲ್ಲ, ಸರ್ವೇಶ್ವರನಾದ ನಾನು ನಿನಗಾಗಿ ಒಂದು ಮನೆತನವನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ. ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು. ನಾನು ಅವನಿಗೆ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ಅವನು ತಪ್ಪುಮಾಡಿದಾಗ, ಮಗನಿಗೆ ತಂದೆ ಬೆತ್ತದ ರುಚಿ ತೋರಿಸುವಂತೆ ನಾನು ಅವನನ್ನು ಶಿಕ್ಷಿಸುವೆನು. ನಿನ್ನ ಮನೆತನವೂ ಅರಸುತನವೂ ಸದಾಕಾಲ ಸ್ಥಿರವಾಗಿರುವುವು; ನಿನ್ನ ಸಿಂಹಾಸನ ಶಾಶ್ವತವಾಗಿರುವುದು." 

ಕೀರ್ತನೆ: 89:2-3, 4-5, 27, 29 

ಶ್ಲೋಕ: ಪ್ರಭೂ, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು 

ಶುಭಸಂದೇಶ: ಲೂಕ 1:67-79 


ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು: ಸ್ತುತಿ ಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ. ತಾನಾಗಿ ಬಂದು ತನ್ನ ಪ್ರಜೆಯನ್ನು ಬಿಡುಗಡೆ ಮಾಡಿದಾತನಿಗೆ. ಉದಯಗೊಳಿಸಿರುವನಾತ ತನ್ನ ದಾಸ ದಾವೀದನ ವಂಶದೊಳು ನಮಗೊಬ್ಬ ಶಕ್ತಿಯುತ ಮುಕ್ತಿದಾತನನು. ಪುರಾತನ ಕಾಲದಿಂದಲೆ. ಪೂಜ್ಯ ಪ್ರವಾದಿಗಳ ಬಾಯಿಂದಲೆ ಅರುಹಿಸಿರುವನು ಇಂತೆಂದು ನಮಗೆ; "ಹಗೆಗಳಿಂದ, ದ್ವೇಷಿಗಳೆಲ್ಲರ ಹಿಡಿತದಿಂದ ನಿಮಗೆ ಅನುಗ್ರಹಿಸುವೆನು ಸಂರಕ್ಷಣೆ" ವ್ಯಕ್ತಪಡಿಸಿರುವನು ಪೂರ್ವಜರಿಗೆ ಪ್ರಮಾಣಿಸಿದ ಪ್ರೀತಿಯನ್ನು, ಸ್ಮರಿಸಿಕೊಂಡಿರುವನು ತನ್ನ ಪವಿತ್ರ ಒಡಂಬಡಿಕೆಯನು. ಪಿತಾಮಹ ಅಬ್ರಹಾಮನಿಗಿತ್ತ ಮಾತಿಗನುಸಾರ ನಮಗಿತ್ತಿರುವರು. ಶತ್ರುಗಳಿಂದ ರಕ್ಷಿಸುವನೆಂಬ ಅಭಯ. ಹೀಗೆ ಜೀವಮಾನವೆಲ್ಲ ನಾವು ಆತನ ಸೇವೆ ಮಾಡುವಂತಾಯಿತು ನಿರ್ಭೀತರಾಗಿ, ಆತನ ಸನ್ನಿಧಿಯಲಿ ಬಾಳುವಂತಾಯಿತು ಪುನಿತರಾಗಿ, ಸದ್ಬಕ್ತರಾಗಿ. ಸುಕುಮಾರಾ, ನೀನೆನಿಸಿಕೊಳ್ಳುವೆ "ಪರಾತ್ಪರನ ಪ್ರವಾದಿ", ಸರ್ವೇಶ್ವರನ ಮಾರ್ಗವನ್ನು ಸಜ್ಜುಗೊಳಿಸುವೆ, ಮುಂದಾಗಿ ತೆರಳಿ ಪಾಪಕ್ಷಮೆಯನ್ನು ಸಾರುವೆ ಆತನ ಪ್ರಜೆಗೆ. ಈ ಮೂಲಕ ಜೀವೋದ್ಧಾರದ ಜ್ಞಾನವನ್ನೀಯುವೆ ಆ ಜನರಿಗೆ. ಕೃಪಾಸಾಗರ, ದಯಾಮಯ, ನಮ್ಮ ದೇವನು, ಆತನ ಕರುಣೆಯಿಂದ ನಮಗಾಯಿತು ಮೇಲಿಂದ ಅರುಣೋದಯವು ಬೆಳಗಿಸಲು ಇರುಳಿನಲು, ಮರಣದ ಮುಸುಕಿನಲು ಬಾಳುವವರನು, ನಮ್ಮ ಕಾಲುಗಳನ್ನೂರಿಸಿ ನಡೆಸಲು ಶಾಂತಿಪಥದೊಳು.

23.12.23

 ಮೊದಲನೇ ವಾಚನ: ಮಲಾಕಿ 3:1-4;  4:5-6 

ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: "ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು. ಆದರೆ ಆತನು ಬರುವಾಗ ಆತನನ್ನು ಎದುರುಗೊಳ್ಳಬಲ್ಲವನು ಯಾರು? ಆತನು ಅಕ್ಕಸಾಲಿಗನ ಕುಲುಮೆಯ ಬೆಂಕಿಗೂಅಗಸನ ಚೌಳಿಗೂ ಸಮಾನನು. ಬೆಳ್ಳಿಯನ್ನು ಶುದ್ಧೀಕರಿಸುವ ಅಕ್ಕಸಾಲಿಗನಂತೆ ಲೇವಿಯ ವಂಶದವರನ್ನು ಶುದ್ಧಗೊಳಿಸುವನು; ಬೆಳ್ಳಿಬಂಗಾರದಂತೆ ಶುದ್ಧೀಕರಿಸುವನು. ಆಗ ಅವರು ಯೋಗ್ಯವಾದ ಕಾಣಿಕೆಗಳನ್ನು ಸರ್ವೇಶ್ವರಸ್ವಾಮಿಗೆ ತಂದೊಪ್ಪಿಸುವರು. ಪೂರ್ವದಿನಗಳಲ್ಲಿ, ಪುರಾತನ ಕಾಲದಲ್ಲಿ ಇದ್ದಂತೆ ಜೂದಾ ಮತ್ತು ಜೆರುಸಲೇಮಿನ ಜನರ ಕಾಣಿಕೆಗಳು ಆ ಸ್ವಾಮಿಗೆ ಮೆಚ್ಚುಗೆಯಾಗಿರುವುವು. ಇಗೋ, ಸರ್ವೇಶ್ವರಸ್ವಾಮಿಯ ಆಗಮನದ ಭಯಂಕರ ಮಹಾದಿನ ಬರುವುದಕ್ಕೆ ಮುಂಚೆ ಪ್ರವಾದಿ ಎಲೀಯನನ್ನು ನಿಮ್ಮಲ್ಲಿಗೆ ಕಳುಹಿಸುವೆನು. ನಾನು ಬಂದು ಲೋಕವನ್ನು ಶಪಿಸಿ ನಾಶಗೊಳಿಸದಂತೆ ಆತನು ಹೆತ್ತವರ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ಹೆತ್ತವರ ಕಡೆಗೂ ಒಲಿಸಿ ಅವರನ್ನು ಒಂದಾಗಿಸುವನು." 

ಕೀರ್ತನೆ: 25:4-5, 8-9, 10, 14 
ಶ್ಲೋಕ: ನೀವು ನಿರೀಕ್ಷಿಸುತ್ತಾ ತಲೆಯೆತ್ತಿ ನಿಲ್ಲಿರಿ, ಏಕೆಂದರೆ, ನಿಮ್ಮ ಉದ್ಧಾರವು ಸಮಿಾಪಿಸಿತು 

ಶುಭಸಂದೇಶ: ಲೂಕ 1:57-66 


ದಿನ ತುಂಬಿದಾಗ ಎಲಿಜಬೇತಳು ಗಂಡು ಮಗುವಿಗೆ ಜನ್ಮವಿತ್ತಳು. ಸರ್ವೇಶ್ವರ ಆಕೆಗೆ ವಿಶೇಷ ಕೃಪೆ ತೋರಿದ್ದಾರೆಂದು ಅರಿತುಕೊಂಡ ನೆರೆಹೊರೆಯವರೂ ಬಂಧುಬಳಗದವರೂ ಬಂದು ಆಕೆಯೊಡನೆ ಸೇರಿ ಸಂತೋಷಪಟ್ಟರು. ಎಂಟನೆಯ ದಿನ ಮಗುವಿನ  ಸುನ್ನತಿಗಾಗಿ ಅವರು ಬಂದು ಅದಕ್ಕೆ , ತಂದೆಯ ಹೆಸರನ್ನು ಅನುಸರಿಸಿ, ಜಕರೀಯನೆಂದು ನಾಮಕರಣ ಮಾಡುವುದರಲ್ಲಿ ಇದ್ದರು. ಆದರೆ ಮಗುವಿನ ತಾಯಿ, "ಇಲ್ಲ, ಅದು ಕೂಡದು, ಅವನಿಗೆ "ಯೊವಾನ್ನ" ಎಂಬ ಹೆಸರಿಡಬೇಕು," ಎಂದಳು. ಅದಕ್ಕೆ ಅವರು, "ನಿನ್ನ ಬಂಧುಬಳಗದವರಲ್ಲಿ ಯಾರಿಗೂ ಈ ಹೆಸರು ಇಲ್ಲವಲ್ಲಾ," ಎಂದು ಹೇಳಿ, "ಮಗುವಿಗೆ ಏನು ಹೆಸರಿಡಬೇಕೆನ್ನುತ್ತೀರಿ?" ಎಂದು ಮಗುವಿನ ತಂದೆಗೆ ಸನ್ನೆಮಾಡಿ ಕೇಳಿದರು. ಆಗ ಜಕರೀಯನು ಬರೆಯುವ ಒಂದು ಹಲಗೆಯನ್ನು ತರಿಸಿಕೊಂಡು, "ಇವನ ಹೆಸರು ಯೊವಾನ್ನ" ಎಂದು ಬರೆದನು.  ಎಲ್ಲರೂ ಬೆರಗಾದರು. ತಕ್ಷಣವೇ ಅವನಿಗೆ ಬಾಯಿ ಬಂದಿತು; ನಾಲಿಗೆ ಸಡಿಲವಾಯಿತು; ಅವನು ಮಾತನಾಡಲು ಆರಂಭಿಸಿ ದೇವರನ್ನು ಸ್ತುತಿಸಿದನು. ನೆರೆಹೊರೆಯವರೆಲ್ಲರೂ ತಲ್ಲಣಗೊಂಡರು. ಈ ಸಮಾಚಾರ ಜುದೇಯದ ಗುಡ್ಡಗಾಡು ಪ್ರಾಂತ್ಯದಲ್ಲೆಲ್ಲಾ ಹರಡಿತು. ಕೇಳಿದವರೆಲ್ಲರೂ ಈ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಂಡು, "ಈ ಮಗು ಮುಂದೆ ಎಂಥವನಾಗುವನೋ!" ಎಂದುಕೊಂಡರು. ನಿಶ್ಚಯವಾಗಿಯೂ ಸರ್ವೇಶ್ವರನ ಅಭಯಹಸ್ತವು ಆ ಮಗುವಿನ ಮೇಲಿತ್ತು.

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...