ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

15.01.24

ಮೊದಲನೇ ವಾಚನ: 1 ಸಮುವೇಲ 15:16-23

ಆಗ ಸಮುವೇಲನು, “ಅದಿರಲಿ; ಸರ್ವೇಶ್ವರ ಕಳೆದ ರಾತ್ರಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು,” ಎಂದನು. ಅವನು, “ಹೇಳು” ಎನ್ನಲು ಸಮುವೇಲನು, “ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಸರ್ವೇಶ್ವರ ನಿನಗೆ ಇಸ್ರಯೇಲರಲ್ಲಿ ರಾಜಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸಾದೆ. ಅವರು ನಿನಗೆ, ‘ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು’ ಎಂದು ಹೇಳಿದರು. ಆದರೆ ನೀನು ಸರ್ವೇಶ್ವರನ ಮಾತನ್ನು ಕೇಳದೆ, ಕೊಳ್ಳೆಗಾಗಿ ಮನಸೋತು, ಅವರಿಗೆ ದ್ರೋಹಮಾಡಿದ್ದೇಕೆ?” ಎಂದನು. ಆಗ ಸೌಲನು ಸಮುವೇಲನಿಗೆ, “ಏನು? ನಾನು ಸರ್ವೇಶ್ವರನ ಮಾತನ್ನು ಕೇಳಲಿಲ್ಲವೇ? ಅವರು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರನ್ನೆಲ್ಲ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದುತಂದೆ. ಆದರೆ ಜನರು ಸಂಪೂರ್ಣವಾಗಿ ಸಂಹರಿಸಬೇಕಾದ ಕೊಳ್ಳೆಯಲ್ಲಿ ಉತ್ತಮವಾದ ಕುರಿದನಗಳನ್ನು ನಿಮ್ಮ ದೇವರಾದ ಸರ್ವೇಶ್ವರನಿಗೆ ಗಿಲ್ಗಾಲಿನಲ್ಲಿ ಬಲಿಯರ್ಪಣೆ ಮಾಡುವುದಕ್ಕಾಗಿ ಉಳಿಸಿ ತಂದರು,” ಎಂದು ಉತ್ತರಕೊಟ್ಟನು. ಅದಕ್ಕೆ ಸಮುವೇಲನು ಇಂತೆಂದನು: “ವಿಧೇಯತೆಯನ್ನು ಮೆಚ್ಚುವಷ್ಟು ಬಲಿ ಹೋಮಗಳನ್ನು ಮೆಚ್ಚು ತ್ತಾರೆಯೇ ಸರ್ವೇಶ್ವರಾ? ಇಲ್ಲ. ಬಲಿಯರ್ಪಣೆಗಿಂತ ಆಜ್ಞಾಪಾಲನೆ ಶ್ರೇಷ್ಠ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟ. ತಂತ್ರಮಂತ್ರಗಳಷ್ಟೇ ಕೆಟ್ಟದು ಪ್ರತಿಭಟನೆ ಕಳ್ಳಭಕ್ತಿಗೂ ವಿಗ್ರಹಾರಾಧನೆಗೂ ಸಮಾನ ಹಟಮಾರಿತನ ನೀ ತಳ್ಳಿಬಿಟ್ಟೆ ಸರ್ವೇಶ್ವರನ ಆದೇಶವನ್ನು; ತಳ್ಳಿಬಿಟ್ಟರವರು ನಿನ್ನ ಅರಸುತನವನ್ನು” ಎಂದು ನುಡಿದನು.

ಕೀರ್ತನೆ: 50:8-9, 16-17, 21, 23
ಶ್ಲೋಕ: ಸನ್ಮಾರ್ಗ ಹಿಡಿದವನಿಗೆ ಪರಮ ಜೀವೋದ್ದಾರವನು

ಶುಭಸಂದೇಶ: ಮಾರ್ಕ 2:18-22

ಯೊವಾನ್ನನ ಶಿಷ್ಯರು ಮತ್ತು ಫರಿಸಾಯರು ಉಪವಾಸವ್ರತವನ್ನು ಕೈಗೊಂಡಿದ್ದ ಒಂದು ಸಂದರ್ಭದಲ್ಲಿ, ಕೆಲವು ಜನರು ಯೇಸುಸ್ವಾಮಿಯ ಬಳಿಗೆ ಬಂದರು. ಅವರು, “ಯೊವಾನ್ನನ ಶಿಷ್ಯರು ಮತ್ತು ಫರಿಸಾಯರ ಶಿಷ್ಯರು ಉಪವಾಸವ್ರತವನ್ನು ಕೈಗೊಳ್ಳುತ್ತಾರೆ, ಆದರೆ ನಿನ್ನ ಶಿಷ್ಯರೇಕೆ ಹಾಗೆ ಮಾಡುವುದಿಲ್ಲ?” ಎಂದು ಕೇಳಿದರು. ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿ ಇರುವಾಗ ಅವನ ಆಪ್ತರು ಉಪವಾಸ ಮಾಡುವುದುಂಟೆ? ಖಂಡಿತವಾಗಿಯೂ ಇಲ್ಲ. ಅವನು ತಮ್ಮ ಜೊತೆಯಲ್ಲಿರುವಷ್ಟು ಕಾಲ ಅವರು ಉಪವಾಸ ಮಾಡಲಾಗದು. ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲ ಬರುವುದು. ಆಗ ಅವರು ಉಪವಾಸ ಮಾಡುವರು. “ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ. ಹಾಕಿದಲ್ಲಿ, ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ. ಅಂತೆಯೇ ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ಯಾರೂ ತುಂಬಿಡುವುದಿಲ್ಲ. ತುಂಬಿಟ್ಟರೆ ಅದರಿಂದ ಬುದ್ದಲಿಗಳು ಬಿರಿಯುತ್ತವೆ. ಮದ್ಯವು ಮತ್ತು ಬುದ್ದಲಿಗಳು ಎರಡೂ ನಷ್ಟವಾಗುತ್ತವೆ. ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು,” ಎಂದರು.

14.01.24 - ‘ಮೆಸ್ಸೀಯ’ ಸಿಕ್ಕಿದ್ದಾರೆ,”

ಮೊದಲನೇ ವಾಚನ: 1 ಸಮುವೇಲ  3:3-10, 19 


ಸಮುವೇಲನು ಸರ್ವೇಶ್ವರನ ಮಂದಿರದಲ್ಲಿ, ದೇವರ ಮಂಜೂಷವಿದ್ದ ಸ್ಥಳದಲ್ಲಿ ಮಲಗಿದ್ದನು. ದೇವರ ದೀಪ ಇನ್ನೂ ಉರಿಯುತ್ತಿತ್ತು. ಆಗ ಸರ್ವೇಶ್ವರಸ್ವಾಮಿ ಸಮುವೇಲನನ್ನು ಕರೆದರು. ಸಮುವೇಲನು, “ಇಗೋ ಬಂದೇ,” ಎಂದು ಉತ್ತರಕೊಟ್ಟು, ಒಡನೆ ಏಲಿಯ ಬಳಿಗೆ ಹೋಗಿ, “ಇಗೋ ಬಂದಿದ್ದೇನೆ; ನೀವು ನನ್ನನ್ನು ಕರೆದಿರಲ್ಲವೆ?” ಎಂದನು. ಏಲಿ, “ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ,” ಎಂದನು. ಸಮುವೇಲನು ಹೋಗಿ ಮಲಗಿದನು. ಸರ್ವೇಶ್ವರ ಪುನಃ, “ಸಮುವೇಲನೇ,” ಎಂದು ಕರೆದರು. ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ, “ಇಗೋ ಬಂದಿದ್ದೇನೆ; ನೀವು ನನ್ನನ್ನು ಕರೆದಿರಲ್ಲವೆ?” ಎಂದನು. ಅವನು, “ಮಗನೇ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ,” ಎಂದನು. ಈವರೆಗೂ ಸಮುವೇಲನಿಗೆ ಸರ್ವೇಶ್ವರನ ನೇರ ಅನುಭವ ಆಗಿರಲಿಲ್ಲ. ದೇವರ ವಾಣಿ ಅವನಿಗೆ ಕೇಳಿಸಿರಲಿಲ್ಲ. ಸರ್ವೇಶ್ವರ ಸಮುವೇಲನನ್ನು ಮೂರನೆಯ ಸಾರಿ ಕರೆದರು. ಅವನು ತಟ್ಟನೆ ಏಲಿಯ ಹತ್ತಿರ ಓಡಿ, “ಇಗೋ, ಬಂದಿದ್ದೇನೆ, ನನ್ನನ್ನು ಕರೆದಿರಲ್ಲಾ,” ಎಂದನು. ಹುಡುಗನನ್ನು ಕರೆದವರು ಸರ್ವೇಶ್ವರನೇ ಎಂದು ಏಲಿಗೆ ತಿಳಿಯಿತು. ಅವನು ಸಮುವೇಲನಿಗೆ, “ಹೋಗಿ ಮಲಗಿಕೋ; ಮತ್ತೆ ಅವರು ನಿನ್ನನ್ನು ಕರೆದರೆ, ‘ಸರ್ವೇಶ್ವರಾ, ಅಪ್ಪಣೆಯಾಗಲಿ; ತಮ್ಮ ದಾಸ ಕಾದಿದ್ದಾನೆ,’ ಎಂದು ಹೇಳು,” ಎಂದನು. ಸಮುವೇಲನು ಹಿಂದಿರುಗಿ ಹೋಗಿ ತನ್ನ ಸ್ಥಳದಲ್ಲೇ ಮಲಗಿಕೊಂಡನು. ಸರ್ವೇಶ್ವರ ಪ್ರತ್ಯಕ್ಷರಾಗಿ ಹಿಂದಿನಂತೆಯೇ, “ಸಮುವೇಲನೇ, ಸಮುವೇಲನೇ,” ಎಂದರು. ಸಮುವೇಲನು, “ಅಪ್ಪಣೆಯಾಗಲಿ, ತಮ್ಮ ದಾಸನಾದ ನಾನು ಕಾದಿದ್ದೇನೆ,” ಎಂದನು. ಸಮುವೇಲನು ದೊಡ್ಡವನಾಗುತ್ತಾ ಬಂದನು. ಸರ್ವೇಶ್ವರ ಅವನೊಡನೆ ಇದ್ದರು. ಆದುದರಿಂದಲೆ ಅವನು ಪ್ರವಾದನೆ ಮಾಡಿದವುಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.
ಪ್ರಭುವಿನ ವಾಕ್ಯ

ಕೀರ್ತನೆ: 40:2, 4, 7-8, 8-9, 10 
ಶ್ಲೋಕ: ಪ್ರಭೂ, ನಿನ್ನ ಚಿತ್ತಾನುಸಾರ ನೆಡೆವುದೇ ನನಗೆ ಪರಮಾವೇಶ. 

ಮೇಲೆತ್ತಿದನು ವಿನಾಶದ ಕೆಸರಿಂದ, ಕರಾಳ ಕೂಪದಿಂದ I
ಗೋರ್ಕಲ್ಲ ಮೇಲಿರಿಸಿ ಹೆಜ್ಜೆಯಿಡಿಸಿದನು ಅತಿ ಧೈರ್ಯದಿಂದ II
ಪ್ರಭುವಿನಲ್ಲೆ ಭರವಸೆ ಇಟ್ಟು ನಡೆವಾತನು ಧನ್ಯನು I
ಗರ್ವಿಗಳನು, ಸುಳ್ಳುದೇವರನು, ಹಿಂಬಾಲಿಸನವನು II

ನಾನೋಗೊಡುತ ಇಂತೆಂದೆ : “ಇಗೋ ನಾನೇ ಬರುತ್ತಿರುವೆ I
ಗ್ರಂಥ ಸುರುಳಿಯಲಿ ನನ್ನ ಕುರಿತು ಲಿಖಿತವಾಗಿದೆಯಲ್ಲವೇ? II
ನಿನ್ನ ಚಿತ್ತಾನುಸಾರ ನಡೆವುದೇ ನನಗೆ ಪರಮಾವೇಶ I
ನನ್ನಂತರಂಗದಲಿದೆ ದೇವಾ, ನಿನ್ನ ಧರ್ಮೋಪದೇಶ” II

ಜೀವೋದ್ಧಾರದ ಶುಭಸಂದೇಶವನು ಸಾರಿದೆ ಮಹಾಸಭೆಗೆ I
ನಾ ಸಾರಿದೆ ಅದನು ಮೌನವಿರದೆ, ಇದು ಗೊತ್ತಿದೆ ಪ್ರಭು ನಿನಗೆ II
ಬಚ್ಚಿಟ್ಟುಕೊಳ್ಳಲಿಲ್ಲ ನನ್ನೆದೆಯೊಳು ನಿನ್ನ ಸತ್ಸಂಬಂಧವನು I
ಪ್ರಕಟಿಸಿದೆನು ಜೀವೋದ್ಧಾರವನು, ನಿನ್ನ ಪ್ರಾಮಾಣಿಕತೆಯನು I
ಮಹಾಸಭೆಗೆ ಮರೆಯಿಸದೆ ಸಾರಿದೆನು ನಿನ್ನ ಪ್ರೀತಿ ಸತ್ಯತೆಯನು II

ಎರಡನೇ ವಾಚನ: 1 ಕೊರಿಂಥಿಯರಿಗೆ 6:13-15, 17-20


ಸಹೋದರರೇ, “ಊಟ ಹೊಟ್ಟೆಗಾಗಿ, ಹೊಟ್ಟೆ ಊಟಕ್ಕಾಗಿ,” ಎಂದು ಹೇಳುವುದುಂಟು. ದೇವರು ಎರಡನ್ನೂ ನಾಶಗೊಳಿಸುವರು. ಆದರೆ ದೇಹವಿರುವುದು ದುರಾಚಾರಕ್ಕಲ್ಲ; ಪ್ರಭುವಿನ ಸೇವೆಗಾಗಿ. ಪ್ರಭುವೇ ದೇಹದ ಪರಿಪಾಲಕ. ಪ್ರಭುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನೂ ತಮ್ಮ ಪರಾಕ್ರಮದಿಂದ ಎಬ್ಬಿಸುವರು. ನಿಮ್ಮ ದೇಹಗಳು ಕ್ರಿಸ್ತಯೇಸುವಿನ ಅಂಗಗಳೆಂದು ನಿಮಗೆ ತಿಳಿಯದೇ? ಹಾಗಾದರೆ ನಾನು ಕ್ರಿಸ್ತಯೇಸುವಿನ ಅಂಗಗಳನ್ನು ತೆಗೆದು ವೇಶ್ಯೆಯ ಅಂಗಗಳನ್ನಾಗಿ ಮಾಡಬಹುದೇ? ಎಂದಿಗೂ ಇಲ್ಲ. ಆದರೆ ಪ್ರಭುವಿನ ಅನ್ಯೋನ್ಯತೆಯಲ್ಲಿ ಇರುವವನು ಅವರೊಂದಿಗೆ ಆಧ್ಯಾತ್ಮಿಕವಾಗಿ ಒಂದಾಗಿರುತ್ತಾನೆ. ವ್ಯಭಿಚಾರದಿಂದ ದೂರ ಸರಿಯಿರಿ. ಮಾನವನು ಮಾಡುವ ಇತರ ಪಾಪಗಳು ದೇಹಕ್ಕೆ ಬಾಹಿರವಾದವುಗಳು. ವ್ಯಭಿಚಾರ ಮಾಡುವಾತನು ತನ್ನ ದೇಹಕ್ಕೇ ದ್ರೋಹ ಬಗೆಯುತ್ತಾನೆ. ದೇವರು ನಿಮಗೆ ಅನುಗ್ರಹಿಸಿರುವ ಪವಿತ್ರಾತ್ಮರಿಗೆ ನಿಮ್ಮ ದೇಹ ಗರ್ಭಗುಡಿಯಾಗಿದೆ; ಆ ಪವಿತ್ರಾತ್ಮ ನಿಮ್ಮಲ್ಲಿ ವಾಸಮಾಡುತ್ತಿದ್ದಾರೆ ಎಂಬುದು ನಿಮಗೆ ಗೊತ್ತಿಲ್ಲವೇ? ನೀವು ನಿಮ್ಮ ಸ್ವಂತ ಸೊತ್ತಲ್ಲ. ಏಕೆಂದರೆ, ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನಿಮ್ಮ ದೇಹದಲ್ಲಿ ಆ ದೇವರ ಮಹಿಮೆ ಬೆಳಗುವಂತೆ ಮಾಡಿರಿ. 
ಪ್ರಭುವಿನ ವಾಕ್ಯ


ಶುಭಸ೦ದೇಶ: ಯೊವಾನ್ನ 1:35-42 


ಮಾರನೆಯ ದಿನ ಯೊವಾನ್ನನು ತನ್ನಿಬ್ಬರು ಶಿಷ್ಯರ ಸಂಗಡ ನಿಂತುಕೊಂಡಿರುವಾಗ, ಯೇಸು ಸ್ವಾಮಿ ಆ ಮಾರ್ಗವಾಗಿ ಹೋಗುತ್ತಿದ್ದರು. ಅವರನ್ನು ನೋಡುತ್ತಲೇ ಯೊವಾನ್ನನು ತನ್ನ ಆ ಶಿಷ್ಯರಿಗೆ, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ,” ಎಂದು ಹೇಳಿದನು. ಇದನ್ನು ಕೇಳಿದ ಆ ಶಿಷ್ಯರು ಯೇಸುವನ್ನು ಹಿಂಬಾಲಿಸಿದರು. ಯೇಸು ಸ್ವಾಮಿ, ತಮ್ಮನ್ನು ಹಿಂಬಾಲಿಸಿ ಬರುತ್ತಿರುವುದನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಿದರು. ಅವರು, “ರಬ್ಬೀ, ತಾವು ವಾಸಮಾಡುವುದೆಲ್ಲಿ?” ಎಂದು ವಿಚಾರಿಸಿದರು. (’ರಬ್ಬಿ’ ಎಂದರೆ ಗುರುದೇವ ಎಂದು ಅರ್ಥ.) ಯೇಸು ಉತ್ತರವಾಗಿ, “ಬಂದು ನೋಡಿ” ಎನ್ನಲು ಅವರು ಹೋಗಿ ಯೇಸು ಸ್ವಾಮಿ ಇದ್ದ ಸ್ಥಳವನ್ನು ಕಂಡು ಆ ದಿನವನ್ನು ಅವರೊಡನೆ ಕಳೆದರು. ಆಗ ಸಾಯಂಕಾಲ ಸುಮಾರು ನಾಲ್ಕು ಗಂಟೆಯಾಗಿತ್ತು. ಯೊವಾನ್ನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ್ದ ಇಬ್ಬರು ಶಿಷ್ಯರಲ್ಲಿ ಸಿಮೋನ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನು. ಇವನು ಮೊದಲು ತನ್ನ ಸಹೋದರ ಸಿಮೋನನನ್ನು ಕಂಡು, “ನಮಗೆ ‘ಮೆಸ್ಸೀಯ’ ಸಿಕ್ಕಿದ್ದಾರೆ,” ಎಂದು ತಿಳಿಸಿ ಅವನನ್ನು ಯೇಸುವಿನ ಬಳಿಗೆ ಕರತಂದನು. (’ಮೆಸ್ಸೀಯ’ ಎಂದರೆ ಅಭಿಷಿಕ್ತನಾದ ಲೋಕೋದ್ಧಾರಕ ಎಂದು ಅರ್ಥ). ಯೇಸು ಸಿಮೋನನನ್ನು ನೋಡಿ, “ಯೊವಾನ್ನನ ಮಗನಾದ ಸಿಮೋನನೇ, ಇನ್ನು ಮುಂದೆ ನಿನ್ನನ್ನು ಕೇಫನೆಂದು ಕರೆಯುವರು,” ಎಂದು ನುಡಿದರು. (’ಕೇಫ’ ಎಂದರೆ ‘ಪೇತ್ರ’ ಇಲ್ಲವೇ ‘ಬಂಡೆ’ ಎಂದರ್ಥ).
ಪ್ರಭುಕ್ರಿಸ್ತರ ಶುಭಸ೦ದೇಶ

13.01.24

ಮೊದಲನೆಯ ವಾಚನ: ಸಮುವೇಲ 9:1-4, 17-19

ಬೆನ್ಯಾಮೀನ ಕುಲದಲ್ಲಿ ಕೀಷನೆಂಬ ಒಬ್ಬ ಐಶ್ವರ್ಯವಂತನಿದ್ದನು. ಇವನು ಚೆರೋನನ ಮಗನೂ ಬೆಕೋರತನ ಮೊಮ್ಮಗನೂ ಆಫೀಹನ ಮರಿಮಗನೂ ಆದ ಅಬೀಯೇಲನ ಮಗ. ಇವನಿಗೆ ಸೌಲನೆಂಬ ಒಬ್ಬ ಮಗನಿದ್ದನು. ಈ ಸೌಲನು ಉತ್ತಮನೂ ಇಸ್ರಯೇಲರಲ್ಲೆಲ್ಲಾ ಅತಿ ಸುಂದರನೂ ಆಗಿದ್ದನು. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರ ಆಗಿದ್ದನು. ಒಂದು ದಿನ ಸೌಲನ ತಂದೆಯಾದ ಕೀಷನ ಕತ್ತೆಗಳು ಕಾಣದೆಹೋದವು. ಅವನು ತನ್ನ ಮಗ ಸೌಲನಿಗೆ, ನೀನೆದ್ದು ಆಳುಗಳಲ್ಲೊಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕಲು ಹೋಗು, ಎಂದು ಹೇಳಿದನು. ಅದರಂತೆಯೇ ಸೌಲನು ಹೊರಟು ಎಫ್ರಯಿಮ್ ಪರ್ವತಪ್ರಾಂತ್ಯ ಹಾಗೂ ಶಾಲಿಷಾನಾಡು ಇವುಗಳಲ್ಲಿ ಸುತ್ತಾಡಿದರೂ ಅವು ಸಿಕ್ಕಲಿಲ್ಲ. ಶಾಲೀಮ್, ಬೆನ್ಯಾಮೀನ ಈ ಪ್ರಾಂತ್ಯಗಳಲ್ಲಿಯೂ ಸಿಕ್ಕಲಿಲ್ಲ. ಸಮುವೇಲನು ಸೌಲನನ್ನು ಕಂಡಾಗ ಸರ್ವೇಶ್ವರ ಅವನಿಗೆ ನಾನು ತಿಳಿಸಿದ್ದ ವ್ಯಕ್ತಿ ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು, ಎಂದು ಸೂಚಿಸಿದನು. ಊರಬಾಗಿಲಿಗೆ ಬಂದ ಸೌಲನು ಎದುರಿಗೆ ಬಂದ ಸಮುವೇಲನನ್ನು ನೋಡಿ, ದಾರ್ಶನಿಕರ ಮನೆ ಎಲ್ಲಿದೆ ಎಂಬುದನ್ನು ದಯವಿಟ್ಟು ತಿಳಿಸುವಿರಾ? ಎಂದನು. ಸಮುವೇಲನು, ನಾನೇ ಆ ದಾರ್ಶನಿಕ; ನೀನು ನನ್ನ ಜೊತೆ ಗುಡ್ಡಕ್ಕೆ ಬಾ, ನೀನು ಈ ಹೊತ್ತು ನನ್ನ ಸಂಗಡ ಊಟಮಾಡಬೇಕು. ನಿನ್ನ ಚಿಂತೆಯನ್ನೆಲ್ಲಾ ಪರಿಹರಿಸಿ ನಾಳೆ ಬೆಳಗ್ಗೆ ನಿನ್ನನ್ನು ಕಳುಹಿಸಿಕೊಡುವೆನು, ಎಂದನು. ಆ ಮೇಲೆ ಸಮುವೇಲನು ಓಲಿವ್ ಎಣ್ಣೇಕುಪ್ಪಿಯಿಂದ ಅವನ ಮೇಲೆ ತೈಲವನ್ನು ಹೊಯ್ದು, ಅವನನ್ನು ಮುದ್ದಿಟ್ಟು ಅವನಿಗೆ, ಸರ್ವೇಶ್ವರ ತಮ್ಮ ಜನರ ಮೇಲೆ ರಾಜ್ಯವಾಳಲು ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾರೆ. ಎಂದನು.

ಕೀರ್ತನೆ: 21:1-2, 5-6
ಶ್ಲೋಕ: ಅರಸನಿಗೆ ಹರ್ಷವಾಯಿತು ಪ್ರಭೂ, ನೀ ತೋರಿದ ಪರಾಕ್ರಮಕ್ಕಾಗಿ.

ಅರಸನಿಗೆ ಹರ್ಷವಾಯಿತು ಪ್ರಭೂ|
ನೀ ತೋರಿದ ಪರಾಕ್ರಮಕ್ಕಾಗಿ
ಆತನ ಮನದಾಸೆಯನು ನೀ ಪೂರೈಸಿದೆ|
ಆತನಧರ ಬಯಕೆಯನು ಅನುಗ್ರಹಿಸಿದೆ||
ನೀನಾತನನು ಸ್ವಾಗತಿಸಿದ ಶುಭಾಶಯದೊಂದಿಗೆ|
ಚಿನ್ನದ ಕಿರೀಟವನು ಮುಡಿಸಿದೆ ಆತನ ಶಿರಸ್ಸಿಗೆ||

ಕೋರಿದನಾತನು ಜೀವಮಾನ ಕಾಲವನು|
ನೀನಿತ್ತೆ ಯುಗಯುಗಾಂತರದ ಆಯುಷ್ಯವನು||

ನಿನ್ನ ನೆರವಿಂದೇರಿತು ಆತನ ಘನತೆ|
ಶೋಭೆ, ಪ್ರಭಾವಗಳ ನೀನವನಿಗಿತ್ತೆ||
ಅಮರ ಭಾಗ್ಯಗಳನು ನೀನನುಗ್ರಹಿಸಿದೆ|
ಶ್ರೀಸನ್ನಿಧಿಯಲಾತನನು ತೋಷಗೊಳಿಸಿದೆ||

ಶುಭಸಂದೇಶ ವಾಚನ: ಮಾರ್ಕ 2: 13-17

ಆ ಕಾಲದಲ್ಲಿ ಯೇಸು ಪುನಃ ಗಲಿಲೇಯ ಸರೋವರದ ತೀರಕ್ಕೆ ಹೋದರು. ಜನರ ಗುಂಪು ಅವರನ್ನು ಸುತ್ತುಗಟ್ಟಿತು. ಯೇಸು ಅವರಿಗೆ ಪ್ರಬೋಧಿಸಿದರು. ಅಲ್ಲಿಂದ ಹೊರಟುಹೋಗುತ್ತಿರುವಾಗ, ಅಲ್ಫಾಯನ ಮಗನಾದ ಲೇವಿಯು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿರುವುದನ್ನು ಯೇಸು ಕಂಡರು. “ನನ್ನನ್ನು ಹಿಂಬಾಲಿಸು, ” ಎಂದು ಹೇಳಿ ಕರೆದರು. ಲೇವಿ ಎದ್ದು ಅವರನ್ನು ಹಿಂಬಾಲಿಸಿದನು. ತದನಂತರ ಯೇಸು ಲೇವಿಯ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ಸುಂಕದವರು, ಪಾಪಿಷ್ಠರು, ಅಲ್ಲಿಗೆ ಬಂದರು. ಇವರೆಲ್ಲರೂ ಯೇಸು ಮತ್ತು ಅವರ ಶಿಷ್ಯರ ಪಂಕ್ತಿಯಲ್ಲೇ ಊಟಕ್ಕೆ ಕುಳಿತರು. ಇಂಥವರು ಬಹುಮಂದಿ ಯೇಸುವನ್ನು ಹಿಂಬಾಲಿಸುತ್ತಿದ್ದರು. ಫರಿಸಾಯ ಪಂಥಕ್ಕೆ ಸೇರಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, ಸುಂಕದವರ ಮತ್ತು ಇತರ ಪಾಪಿಗಳ ಪಂಕ್ತಿಯಲ್ಲಿ ಯೇಸು ಊಟ ಮಾಡುವುದನ್ನು ಕಂಡು, “ಈತನು ಇಂಥಾ ಬಹಿಷ್ಕøತ ಜನರ ಜೊತೆಯಲ್ಲಿ ಊಟ ಮಾಡುವುದೇಕೆ?” ಎಂದು ಯೇಸುವಿನ ಶಿಷ್ಯರೊಡನೆ ಆಕ್ಷೇಪಿಸಿದರು. ಇದನ್ನು ಕೇಳಿಸಿಕೊಂಡ ಯೇಸು ಅವರಿಗೆ, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ; ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು, ” ಎಂದರು.

12.01.24 - “ಇಂಥ ಕಾರ್ಯವನ್ನು ನಾವು ನೋಡಿದ್ದೇ ಇಲ್ಲ!”

 ಮೊದಲನೇ ವಾಚನ: 1 ಸಮುವೇಲ 8:4-7, 10-22

ಇಸ್ರಯೇಲರ ಹಿರಿಯರೆಲ್ಲರೂ ಕೂಡಿ ರಾಮಾದಲ್ಲಿದ್ದ ಸಮುವೇಲನ ಬಳಿಗೆ ಬಂದು, “ತಾವಂತೂ ಮುದುಕರಾದಿರಿ; ನಿಮ್ಮ ಮಕ್ಕಳು ನಿಮ್ಮ ಮಾರ್ಗದಲ್ಲಿ ನಡೆಯುವುದಿಲ್ಲ. ಆದುದರಿಂದ ಬೇರೆ ಎಲ್ಲ ಜನಾಂಗಗಳಿಗಿರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿ; ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ,” ಎಂದರು. ‘ನ್ಯಾಯಸ್ಥಾಪನೆಗಾಗಿ ನಮಗೊಬ್ಬ ಅರಸನನ್ನು ನೇಮಿಸಿ ಕೊಡಿ’ ಎಂಬ ಮಾತಿಗೆ ಸಮುವೇಲನು ದುಃಖಪಟ್ಟನು. ಸರ್ವೇಶ್ವರನನ್ನು ಪ್ರಾರ್ಥಿಸಿದನು. ಸರ್ವೇಶ್ವರ ಅವನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆ ಬೇಡವೆನ್ನುತ್ತಾರೆ. ಸಮುವೇಲನು ಅರಸಬೇಕೆಂದು ಕೋರಿದ ಜನರಿಗೆ, ಸರ್ವೇಶ್ವರನ ಮಾತುಗಳನ್ನೆಲ್ಲಾ ತಿಳಿಸಿದನು. “ಅರಸನ ಅಧಿಕಾರ ಎಷ್ಟೆಂದು ಕೇಳಿರಿ: ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು; ಅವರು ಅವನ ರಥಗಳ ಮುಂದೆ ಓಡಬೇಕಾಗುವುದು. ಕೆಲವರನ್ನು ಸಹ ಸಹಸ್ರಾಧಿಪತಿಗಳನ್ನಾಗಿಯೂ ಕೆಲವರನ್ನು ಪಂಚಾ ಶತಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಾಯುಧ, ರಥಸಾಮಗ್ರಿಗಳನ್ನು ಮಾಡುವವರೂ ಆಗಬೇಕು. ಇದಲ್ಲದೆ ಅವನು ನಿಮ್ಮ ಹೆಣ್ಣು ಮಕ್ಕಳನ್ನು ಪರಿಮಳ ದ್ರವ್ಯ ಮಾಡುವುದಕ್ಕೂ, ಅಡುಗೆ ಮಾಡುವುದಕ್ಕೂ, ರೊಟ್ಟಿ ಸುಡುವುದಕ್ಕೂ ನೇಮಿಸಿಕೊಳ್ಳುವನು. ನಿಮ್ಮ ಉತ್ತಮವಾದ ಹೊಲಗಳನ್ನೂ ದ್ರಾಕ್ಷಿ ತೋಟಗಳನ್ನೂ ಎಣ್ಣೆ ಮರದ ತೋಪುಗಳನ್ನೂ ಕಿತ್ತುಕೊಂಡು ತನ್ನ ಸೇವಕರಿಗೆ ಕೊಡುವನು. ನಿಮ್ಮ ಧಾನ್ಯ ದ್ರಾಕ್ಷಿಗಳಲ್ಲಿ ದಶಮಾಂಶವನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಪರಿವಾರದವರಿಗೂ ಕೊಡುವನು. ನಿಮ್ಮ ದಾಸ ದಾಸಿಯರನ್ನು ಹಾಗು ಉತ್ತಮವಾದ ಎತ್ತು ಕತ್ತೆಗಳನ್ನು ತನಗಾಗಿ ದುಡಿಸಿಕೊಳ್ಳುವನು. ಕುರಿ ಹಿಂಡುಗಳಲ್ಲೂ ಹತ್ತರಲ್ಲೊಂದು ಭಾಗವನ್ನು ತೆಗೆದುಕೊಳ್ಳುವನು; ನೀವೂ ಅವನಿಗೆ ಗುಲಾಮರಾಗಿರಬೇಕು. ಆಗ, ನೀವು ಆರಿಸಿಕೊಂಡ ಅರಸನ ನಿಮಿತ್ತ, ಆ ದಿನದಲ್ಲಿ ಬೇಸತ್ತು ಸರ್ವೇಶ್ವರನಿಗೆ ಮೊರೆಯಿಡುವಿರಿ; ಆಗ ಅವರು ನಿಮ್ಮನ್ನು ಲಕ್ಷಿಸುವುದಿಲ್ಲ,” ಎಂದನು. ಹೀಗೆ ಸಮುವೇಲನು ಎಷ್ಟು ಹೇಳಿದರೂ ಜನರು ಕೇಳದೆ ಹೋದರು. “ಅದಿರಲಿ; ನಮಗೆ ಅರಸನನ್ನು ಕೊಡು; ನಾವು ಇತರ ಜನಾಂಗಗಳಂತೆ ಆಗಬೇಕು. ನಮ್ಮ ನ್ಯಾಯಗಳನ್ನು ತೀರಿಸಿ, ನಮಗೆ ಮುಂದಾಗಿ ಹೊರಟು, ನಮ್ಮ ಪರವಾಗಿ ಯುದ್ಧ ಮಾಡುವ ಒಬ್ಬ ಅರಸನು ಬೇಕು,” ಎಂದು ಹೇಳಿದರು. ಸಮುವೇಲನು ಜನರ ಈ ಎಲ್ಲ ಮಾತುಗಳನ್ನು ಸರ್ವೇಶ್ವರನಿಗೆ ತಿಳಿಸಿದನು. ಸರ್ವೇಶ್ವರ ಅವನಿಗೆ, “ಅವರ ಇಷ್ಟದಂತೆ ಅವರಿಗೊಬ್ಬ ಅರಸನನ್ನು ನೇಮಿಸು,” ಎಂದರು. ಆಗ ಸಮುವೇಲನು ಇಸ್ರಯೇಲರಿಗೆ, “ನಿಮ್ಮ ನಿಮ್ಮ ಊರುಗಳಿಗೆ ಹೋಗಿರಿ,” ಎಂದು ಅಪ್ಪಣೆ ಕೊಟ್ಟನು.

ಕೀರ್ತನೆ: 89:16-17, 18-19
ಶ್ಲೋಕ: ಪ್ರಭೂ, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು.

ಶುಭಸಂದೇಶ: ಮಾರ್ಕ 2:1-12

ಕೆಲವು ದಿನಗಳು ಕಳೆದ ಬಳಿಕ ಯೇಸುಸ್ವಾಮಿ ಮತ್ತೊಮ್ಮೆ ಕಫೆರ್ನವುಮಿಗೆ ಬಂದರು. ಅವರು ಮನೆಯಲ್ಲಿದ್ದಾರೆಂಬ ಸುದ್ದಿ ಹಬ್ಬಿತು. ಜನರು ಗುಂಪು ಗುಂಪಾಗಿ ಅಲ್ಲಿಗೆ ಬಂದರು. ಇದರಿಂದಾಗಿ ಮನೆಯೊಳಗೆ ಮಾತ್ರವಲ್ಲ, ಹೊರಗಡೆಯೂ ಸ್ಥಳ ಸಾಲದೆ ಹೋಯಿತು. ಯೇಸು ಅಲ್ಲಿ ಸೇರಿದ್ದ ಜನಸ್ತೋಮಕ್ಕೆ ದೇವರ ವಾಕ್ಯವನ್ನು ಬೋಧಿಸತೊಡಗಿದರು. ಆಗ ಒಬ್ಬ ಪಾಶ್ರ್ವ ವಾಯು ರೋಗಿಯನ್ನು ನಾಲ್ವರಿಂದ ಹೊರಿಸಿಕೊಂಡು ಕೆಲವರು ಅಲ್ಲಿಗೆ ಬಂದರು. ಜನಸಂದಣಿಯ ನಿಮಿತ್ತ ಅವನನ್ನು ಯೇಸುವಿನ ಸಮೀಪಕ್ಕೆ ಸಾಗಿಸಲು ಸಾಧ್ಯವಾಗಲಿಲ್ಲ. ಆದುದರಿಂದ ಅವರು ಯೇಸು ಇದ್ದ ಮನೆಯ ಮೇಲ್ಛಾವಣಿಯನ್ನು ತೆರೆದು, ದೊಡ್ಡ ಕಿಂಡಿಯೊಂದನ್ನು ಮಾಡಿ, ರೋಗಿಯನ್ನು ಹಾಸಿಗೆಯ ಸಮೇತ ಕೆಳಗಿಳಿಸಿದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ ಆ ಪಾರ್ಶ್ವವಾಯು ರೋಗಿಗೆ, “ಮಗು, ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು. ಆಗ, ಅಲ್ಲೇ ಕುಳಿತಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, “ಇವನೇಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ! ದೇವರೊಬ್ಬರ ಹೊರತು ಪಾಪಗಳನ್ನು ಕ್ಷಮಿಸಲು ಬೇರೆ ಯಾರಿಂದ ಸಾಧ್ಯ?” ಎಂದು ತಮ್ಮ ಮನಸ್ಸಿನಲ್ಲೇ ಆಲೋಚಿಸಿಕೊಳ್ಳುತ್ತಿದ್ದರು. ಅವರು ಹೀಗೆ ಯೋಚಿಸುತ್ತಿರುವುದನ್ನು ಯೇಸು ತಕ್ಷಣ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುತ್ತಿರುವುದು ಏಕೆ? ಈ ಪಾರ್ಶ್ವವಾಯು  ರೋಗಿಗೆ, ‘ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,’ ಎಂದು ಹೇಳುವುದು ಸುಲಭವೋ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎನ್ನುವುದು ಸುಲಭವೋ? ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರವುಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ನಾನು ನಿನಗೆ ಆಜ್ಞಾಪಿಸುತ್ತೇನೆ; ಏಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು,” ಎಂದರು. ಎಲ್ಲರೂ ನೋಡುತ್ತಿದ್ದ ಹಾಗೆ ಅವನು ಎದ್ದು ನಿಂತನು; ತನ್ನ ಹಾಸಿಗೆಯನ್ನು ತಾನೇ ಎತ್ತಿಕೊಂಡು ಹೊರಟು ಹೋದನು. ನೆರೆದಿದ್ದ ಎಲ್ಲರೂ ಆಶ್ಚರ್ಯಚಕಿತರಾಗಿ, “ಇಂಥ ಕಾರ್ಯವನ್ನು ನಾವು ನೋಡಿದ್ದೇ ಇಲ್ಲ!”, ಎಂದು ದೇವರನ್ನು ಕೊಂಡಾಡಿದರು.

11.01.24 - “ಖಂಡಿತವಾಗಿ ನನಗೆ ಮನಸ್ಸಿದೆ, ನಿನಗೆ ಗುಣವಾಗಲಿ"

ಮೊದಲನೇ ವಾಚನ: 1 ಸಮುವೇಲ 4: 1-11


ಇಸ್ರಯೇಲರು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸವಿೂಪದಲ್ಲಿ ಪಾಳೆಯ ಮಾಡಿಕೊಂಡರು. ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳಿದುಕೊಂಡರು. ಇವರು ಇಸ್ರಯೇಲರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧ ಮಾಡಿದರು. ಇಸ್ರಯೇಲರು ಸೋತರು. ರಣರಂಗದಲ್ಲಿ ಸುಮಾರು ನಾಲ್ಕು ಸಾವಿರ ಮಂದಿ ಇಸ್ರಯೇಲರನ್ನು ಫಿಲಿಷ್ಟಿಯರು ಸಂಹರಿಸಿದರು. ಇಸ್ರಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರೊಡನೆ ಅವರ ಹಿರಿಯರು, “ಸರ್ವೇಶ್ವರ ಈ ದಿನ ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶಿಲೋವಿನಿಂದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ತರೋಣ; ಅವರು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ರಕ್ಷಿಸಲಿ,” ಎಂದು ಸಮಾಲೋಚಿಸಿದರು. ಅಂತೆಯೇ ಜನರನ್ನು ಕಳುಹಿಸಿ ಕೆರೂಬಿಗಳ ಮಧ್ಯದಲ್ಲಿ ಆಸೀನರಾಗಿರುವ ಸೇನಾಧೀಶ್ವರ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು. ಸರ್ವೇಶ್ವರನ ಒಡಂಬಡಿಕೆಯ ಮಂಜೂಷ ಪಾಳೆಯಕ್ಕೆ ಬಂದಾಗ ಇಸ್ರಯೇಲರೆಲ್ಲರೂ ಭೂಮಿ ಬಿರಿಯುವಷ್ಟು ಗಟ್ಟಿಯಾಗಿ ಜಯಕಾರ ಮಾಡಿದರು. ಫಿಲಿಷ್ಟಿಯರು ಇದನ್ನು ಕೇಳಿ, “ಹಿಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೆ ಏನು ಕಾರಣ?” ಎಂದು ವಿಚಾರಿಸಿದರು. ಸರ್ವೇಶ್ವರನ ಮಂಜೂಷವು ಪಾಳೆಯಕ್ಕೆ ಬಂದದ್ದೇ ಕಾರಣವೆಂದು ಗೊತ್ತಾಯಿತು. “ದೇವರು ಇವರ ಪಾಳೆಯಕ್ಕೆ ಬಂದಿದ್ದಾರಂತೆ!” ಎಂದುಕೊಂಡು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟರು. “ಅಯ್ಯೋ, ಹಿಂದೆ ಹೀಗಿರಲಿಲ್ಲ. ಅಕಟಾ, ಪ್ರತಾಪವುಳ್ಳ ಈ ದೇವರುಗಳ ಕೈಯಿಂದ ನಮ್ಮನ್ನು ಬಿಡಿಸುವವರಾರು? ಈಜಿಪ್ಟರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೆ? ಫಿಲಿಷ್ಟಿಯರೇ, ಧೈರ್ಯಗೊಳ್ಳಿ; ಶೂರರಾಗಿರಿ! ಇಲ್ಲವಾದರೆ ನಿಮಗೆ ಗುಲಾಮರಾಗಿದ್ದ ಹಿಬ್ರಿಯರಿಗೆ ನೀವೇ ಗುಲಾಮರಾದೀರಿ; ಆದಕಾರಣ ಶೌರ್ಯದಿಂದ ಯುದ್ಧಮಾಡಿ!” ಎಂದು ಹೇಳಿಕೊಂಡು ಯುದ್ಧಮಾಡಿದರು. ಇಸ್ರಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು. ದೇವರ ಮಂಜೂಷ ಶತ್ರುವಶವಾಯಿತು. ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸ ಹತರಾದರು.


ಕೀರ್ತನೆ: 44:10-11, 14-15, 24-25
ಶ್ಲೋಕ: ಪ್ರಭೂ, ನಿನ್ನಚಲ ಪ್ರೇಮದಿಂದ ನಮ್ಮನು ಉದ್ಧರಿಸು 

ಶುಭಸಂದೇಶ: ಮಾರ್ಕ 1:40-45



ಒಮ್ಮೆ ಕುಷ್ಠರೋಗಿಯೊಬ್ಬನು ಯೇಸುಸ್ವಾಮಿಯ ಬಳಿಗೆ ಬಂದು, ಮೊಣಕಾಲೂರಿ, “ತಾವು ಮನಸ್ಸು ಮಾಡಿದ್ದಲ್ಲಿ ನನ್ನನ್ನು ಗುಣ ಮಾಡಬಲ್ಲಿರಿ,” ಎಂದು ದೈನ್ಯದಿಂದ ಬೇಡಿಕೊಂಡನು. ಯೇಸುವಿನ ಮನ ಕರಗಿತು. ಅವರು ಕೈಚಾಚಿ, ಕುಷ್ಠರೋಗಿಯನ್ನು ಮುಟ್ಟಿ, “ಖಂಡಿತವಾಗಿ ನನಗೆ ಮನಸ್ಸಿದೆ, ನಿನಗೆ ಗುಣವಾಗಲಿ,” ಎಂದರು. ತಕ್ಷಣ ಅವನ ಕುಷ್ಠವು ಮಾಯವಾಯಿತು. ಅವನು ಗುಣಹೊಂದಿದನು. ಯೇಸು ಅವನಿಗೆ, “ಎಚ್ಚರಿಕೆ! ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ. ಅನಂತರ ಮೋಶೆ ನಿಯಮಿಸಿರುವ ಶುದ್ಧೀಕರಣ ವಿಧಿಗಳನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದು ಎಚ್ಚರಿಸಿ ಅವನನ್ನು ಕೂಡಲೇ ಕಳುಹಿಸಿಬಿಟ್ಟರು. ಯೇಸು ಅವನಿಗೆ, “ಎಚ್ಚರಿಕೆ! ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ. ಅನಂತರ ಮೋಶೆ ನಿಯಮಿಸಿರುವ ಶುದ್ಧೀಕರಣ ವಿಧಿಗಳನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದು ಎಚ್ಚರಿಸಿ ಅವನನ್ನು ಕೂಡಲೇ ಕಳುಹಿಸಿಬಿಟ್ಟರು. ಆದರೆ ಅವನು ಹೋಗಿ ಈ ಸಮಾಚಾರವನ್ನು ಎಲ್ಲೆಲ್ಲೂ ಸಾರಿದನು. ಈ ಕಾರಣ ಯೇಸು ಬಹಿರಂಗವಾಗಿ ಯಾವ ಪಟ್ಟಣದೊಳಕ್ಕೂ ಹೋಗಲು ಆಗಲಿಲ್ಲ. ಆದುದರಿಂದ ನಿರ್ಜನ ಪ್ರದೇಶಗಳಲ್ಲೇ ಇರತೊಡಗಿದರು. ಆದರೂ ಜನರು ನಾಲ್ದೆಸೆಗಳಿಂದ ಅವರು ಇದ್ದೆಡೆಗೆ ಬರುತ್ತಲೇ ಇದ್ದರು.

10.01.24 - ನಾನಾ ರೋಗಗಳಿಂದ ನರಳುತ್ತಿದ್ದವರನ್ನು ಯೇಸು ಗುಣಪಡಿಸಿದರು. ದೆವ್ವ ಹಿಡಿದವರಿಂದ ದೆವ್ವ ಬಿಡಿಸಿದರು


 
ಮೊದಲನೆಯ ವಾಚನ - ಸಮುವೇಲನ  ಮೊದಲನೆಯ  ಗ್ರಂಥ - 3:1-10, 19-20

Uploading: 570921 of 570921 bytes uploaded.

ಬಾಲಕ ಸಮುವೇಲನು ಏಲಿಯ ನೇತೃತ್ವದಲ್ಲಿ ಸರ್ವೇಶ್ವರನ ಸೇವೆಮಾಡುತ್ತಾ ಬಂದನು. ಆ ಕಾಲದಲ್ಲಿ ದೈವೋಕ್ತಿಗಳು ವಿರಳ ಆಗಿದ್ದವು;  ದೇವದರ್ಶನಗಳು ಅಪರೂಪವಾಗಿ  ಬಿಟ್ಟಿದ್ದವು. ಏಲಿಯ ಕಣ್ಣುಗಳು ದಿನದಿನಕ್ಕೂ ಮೊಬ್ಬಾಗುತ್ತಾ ಬಂದು  ಕುರುಡನಂಥಾಗಿ ಬಿಟ್ಟಿದ್ದನು.  ಒಂದು ರಾತ್ರಿ ಅವನು ತನ್ನ ಕೋಣೆಯಲ್ಲಿ ಮಲಗಿದ್ದನು.  ಸಮುವೇಲನು ಸರ್ವೇಶ್ವರನ ಮಂದಿರದಲ್ಲಿ, ದೇವರ ಮಂಜೂಷವಿದ್ದ ಸ್ಥಳದಲ್ಲಿ ಮಲಗಿದ್ದನು. ದೇವರ ದೀಪ ಇನ್ನೂ ಉರಿಯುತ್ತಿತ್ತು. ಆಗ ಸರ್ವೇಶ್ವರಸ್ವಾಮಿ ಸಮುವೇಲನನ್ನು ಕರೆದರು. ಸಮುವೇಲನು ಇಗೋ ಬಂದೆ ಎಂದು ಉತ್ತರಕೊಟ್ಟು, ಒಡನೆ ಏಲಿಯ ಬಳಿಗೆ ಹೋಗಿ, ಇಗೋ ಬಂದಿದ್ದೇನೆ;  ನೀವು ನನ್ನನ್ನು ಕರೆದಿರಲ್ಲವೇ? ಎಂದನು. ಏಲಿ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ ಎಂದನು. ಸಮುವೇಲನು ಹೋಗಿ ಮಲಗಿದನು. ಸರ್ವೇಶ್ವರ ಪುನಃ ಸಮುವೇಲನೇ ಎಂದು ಕರೆದರು.  ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ, ಇಗೋ ಬಂದಿದ್ದೇನೆ; ನೀವು ನನ್ನನ್ನು ಕರೆದಿರಲ್ಲವೆ? ಎಂದನು.  ಅವನು, ಮಗನೇ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ, ಎಂದನು. ಈವರೆಗೂ ಸಮುವೇಲನಿಗೆ ಸರ್ವೇಶ್ವರನ ನೇರ ಅನುಭವ ಆಗಿರಲಿಲ್ಲ.  ದೇವರ ವಾಣಿ ಅವನಿಗೆ ಕೇಳಿಸಿರಲಿಲ್ಲ. ಸರ್ವೇಶ್ವರ ಸಮುವೇಲನನ್ನು ಮೂರನೆಯ ಸಾರಿ ಕರೆದರು. ಅವನು ತಟ್ಟನೆ ಏಲಿಯ ಹತ್ತಿರ ಓಡಿ, ಇಗೋ, ಬಂದಿದ್ದೇನೆ, ನನ್ನನ್ನು ಕರೆದಿರಲ್ಲಾ, ಎಂದನು. ಹುಡುಗನನ್ನು ಕರೆದವರು ಸರ್ವೇಶ್ವರನೇ ಎಂದು ಏಲಿಗೆ ತಿಳಿಯಿತು.  ಅವನು ಸಮುವೇಲನಿಗೆ, ಹೋಗಿ ಮಲಗಿಕೋ;  ಮತ್ತೆ ಅವರು ನಿನ್ನನ್ನು ಕರೆದರೆ, 'ಸರ್ವೇಶ್ವರಾ ಅಪ್ಪಣೆಯಾಗಲಿ;  ತಮ್ಮ ದಾಸ ಕಾದಿದ್ದಾನೆ,' ಎಂದು ಹೇಳು, ಎಂದನು. ಸಮುವೇಲನು ಹಿಂದಿರುಗಿ ಹೋಗಿ ತನ್ನ ಸ್ಥಳದಲ್ಲೇ ಮಲಗಿಕೊಂಡನು. ಸರ್ವೇಶ್ವರ ಪ್ರತ್ಯಕ್ಷರಾಗಿ ಹಿಂದಿನಂತೆಯೇ, ಸಮುವೆಲನೇ, ಸಮುವೇಲನೇ, ಎಂದರು.  ಸಮುವೇಲನು, ಅಪ್ಪಣೆಯಾಗಲಿ, ತಮ್ಮ ದಾಸನಾದ ನಾನು ಕಾದಿದ್ದೇನೆ, ಎಂದನು.  ಸಮುವೇಲನು ದೊಡ್ಡವನಾಗುತ್ತಾ ಬಂದನು. ಸರ್ವೇಶ್ವರ ಅವನೊಡನೆ ಇದ್ದರು. ಆದುದರಿಂದಲೇ ಅವನು ಪ್ರವಾದನೆ ಮಾಡಿದವುಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ. ಸರ್ವೇಶ್ವರ ಅವನನ್ನು ತಮ್ಮ ಪ್ರವಾದಿಯನ್ನಾಗಿ ನೇಮಿಸಿಕೊಂಡರು. ಈ ಸಂಗತಿ ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲಾ ಇಸ್ರಯೇಲರಿಗೆ ತಿಳಿಯಿತು.

ಪ್ರಭುವಿನ  ವಾಕ್ಯ

ಕೀರ್ತನೆ 40:1, 4, 6-9

ಶ್ಲೋಕ:  ಪ್ರಭೂ, ನಿನ್ನ  ಚಿತ್ತಾನುಸಾರ  ನಡೆವುದೇ ನನಗೆ  ಪರಮಾವೇಶ


1. ಕಾದಿದ್ದೆನು, ಪ್ರಭುವಿಗಾಗಿ ಕಾದಿದ್ದೆನು
ಕೊನೆಗಾತ ನನ್ನತ್ತ ಬಾಗಿ ಕಿವಿಗೊಟ್ಟನು
ಪ್ರಭುವಿನಲ್ಲೆ ಭರವಸೆ ಇಟ್ಟು ನಡೆವಾತನು ಧನ್ಯನು
ಗರ್ವಿಗಳನು, ಸುಳ್ಳುದೇವರನು, ಹಿಂಬಾಲಿಸನವನು. ಶ್ಲೋಕ

2.  ಬೇಡವಾದವು ನಿನಗೆ ಯಜ್ಞಾರ್ಪಣೆಬಲಿಕಾಣಿಕೆ
ಬಯಸಿಲ್ಲ ನೀ ಹೋಮವನೆಪರಿಹಾರಕ ಬಲಿಯನೆ
ಶ್ರವಣಶಕ್ತಿಯನು ಅನುಗ್ರಹಿಸಿದೆ ನೀನು ನನಗೆಶ್ಲೋಕ
 
3.  ನಾನೋಗೊಡುತ ಇಂತೆಂದೆ: “ಇಗೋ ನಾನೇ ಬರುತ್ತಿರುವೆ
ಗ್ರಂಥ ಸುರುಳಿಯಲಿ ನನ್ನ ಕುರಿತು ಲಿಖಿತವಾಗಿದೆಯಲ್ಲವೇ?
ನಿನ್ನ ಚಿತ್ತಾನುಸಾರ ನಡೆವುದೇ ನನಗೆ ಪರಮಾವೇಶ
ನನ್ನಂತರಂಗದಲಿದೆ ದೇವಾನಿನ್ನ ಧರ್ಮೋಪದೇಶ”. ಶ್ಲೋಕ
 
4.  ಜೀವೋದ್ಧಾರದ ಶುಭಸಂದೇಶವನು ಸಾರಿದೆ ಮಹಾಸಭೆಗೆ
ನಾ ಸಾರಿದೆ ಅದನು ಮೌನವಿರದೆಇದು ಗೊತ್ತಿದೆ ಪ್ರಭು ನಿನಗೆಶ್ಲೋಕ


ಘೋಷಣೆ : ಕೀರ್ತನೆ 111: 07-08

ಅಲ್ಲೆಲೂಯ, ಅಲ್ಲೆಲೂಯ!
ನೀತಿ ಸತ್ಯತೆ ಯುಳ್ಳವು ಆತನ ಸತ್ಕಾರ್ಯಗಳು
ಸುಸ್ಥಿರವಾದವು ಆತನ ನಿಯಮ ನಿಬಂಧನೆಗಳು
ಯುಗಯುಗಾಂತರಕ್ಕು ದೃಢವಾಗಿರುವುವು
ಅಲ್ಲೆಲೂಯ!

ಶುಭಸಂದೇಶ ವಾಚನ : ಮಾರ್ಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 1:29-39


ಆ ಕಾಲದಲ್ಲಿ ಯೇಸು ಪ್ರಾರ್ಥನಾ ಮಂದಿರದಿಂದ ಹೊರಟು ಯಾಕೋಬ ಮತ್ತು ಯೊವಾನ್ನನ ಸಂಗಡ ಸಿಮೋನ ಮತ್ತು ಅಂದ್ರೇಯನ ಮನೆಗೆ ಹೋದರು. ಸಿಮೋನನ ಅತ್ತೆ ಜ್ವರದಿಂದ ಮಲಗಿದ್ದಳು. ಇದನ್ನು ಯೇಸುವಿಗೆ ತಿಳಿಸಿದರು. ಯೇಸು ಆಕೆಯ ಬಳಿಗೆ ಹೋಗಿ ಕೈಹಿಡಿದು ಎಬ್ಬಿಸಿದರು. ಜ್ವರ ಬಿಟ್ಟುಹೋಯಿತು. ಆಕೆ ಅವರೆಲ್ಲರನ್ನು ಸತ್ಕರಿಸಿದಳು. ಸಂಜೆ ಸೂರ್ಯ ಮುಳುಗಿದ ಮೇಲೆ ಜನರು ರೋಗಿಗಳನ್ನು ದೆವ್ವಹಿಡಿದವರನ್ನೂ ಯೇಸುವಿನ ಬಳಿಗೆ ಕರೆತಂದರು. ಊರಿಗೆ ಊರೇ ಆ ಮನೆಯ ಬಾಗಿಲಲ್ಲಿ ನೆರೆಯಿತು. ನಾನಾ ರೋಗಗಳಿಂದ ನರಳುತ್ತಿದ್ದವರನ್ನು ಯೇಸು ಗುಣಪಡಿಸಿದರು. ದೆವ್ವ ಹಿಡಿದವರಿಂದ ದೆವ್ವ ಬಿಡಿಸಿದರು, ತಾವು ಯಾರೆಂಬುದನ್ನು ದೆವ್ವಗಳು ಅರಿತಿದ್ದುದರಿಂದ ಯೇಸು ಅವುಗಳಿಗೆ ಮಾತನಾಡಲು ಅವಕಾಶಕೊಡಲಿಲ್ಲ. ಮುಂಜಾನೆ ಬೆಳಕು ಹರಿಯುವ ಮುನ್ನ ಯೇಸು ಎದ್ದು ಏಕಾಂತ ಪ್ರದೇಶಕ್ಕೆ ಹೋಗಿ ಪ್ರಾರ್ಥನೆ ಮಾಡುತ್ತಿದ್ದರು. ಇತ್ತ, ಸಿಮೋನನು ಅವನ ಜೊತೆಗಾರರು ಯೇಸುವನ್ನು ಹುಡುಕಿಕೊಂಡು ಹೋದರು. ಅವರನ್ನು ಕಂಡಕೂಡಲೇ, ಎಲ್ಲರು ತಮ್ಮನ್ನೇ ಹುಡುಕುತ್ತಿದ್ದಾರೆ, ಎಂದು ತಿಳಿಸಿದರು. ಅದಕ್ಕೆ ಯೇಸು, ಅಕ್ಕಪಕ್ಕದ ಊರುಗಳಿಗೆ ಹೋಗೋಣ. ಅಲ್ಲೂ ನಾನು ಶುಭಸಂದೇಶ ಸಾರಬೇಕು. ನಾನು ಬಂದಿರುವುದು ಈ ಉದ್ದೇಶಕ್ಕಾಗಿಯೇ, ಎಂದರು. ಅನಂತರ ಯೇಸು ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾಮಂದಿರಗಳಲ್ಲಿ ಪ್ರಬೋಧಿಸುತ್ತಾ ದೆವ್ವಗಳನ್ನು ಬಿಡಿಸುತ್ತಾ ಬಂದರು.

- ಪ್ರಭುವಿನ  ಶುಭಸಂದೇಶ

09.01.24 - "ಸುಮ್ಮನಿರು, ಇವನನ್ನು ಬಿಟ್ಟು ತೊಲಗು"

 ಮೊದಲನೇ ವಾಚನ: 1 ಸಮುವೇಲ 1:9-20

ಶಿಲೋವಿನಲ್ಲಿ ಅವರು ಅನ್ನ ಪಾನಗಳನ್ನು ತೆಗೆದುಕೊಂಡ ಮೇಲೆ ಹನ್ನಳು ಎದ್ದು ಸರ್ವೇಶ್ವರನ ಮಂದಿರಕ್ಕೆ ಬಂದಳು. ಯಾಜಕ ಏಲಿಯನು ಆ ಮಂದಿರದ ದ್ವಾರದ ನಿಲುವು ಪಟ್ಟಿಗಳ ಬಳಿ ಬಂದು ಪೀಠದ ಮೇಲೆ ಕುಳಿತ್ತಿದ್ದನು. ಹನ್ನಳು ಬಹು ದುಃಖದಿಂದ ಕಣ್ಣೀರಿಡುತ್ತಾ ಸರ್ವೇಶ್ವರನಲ್ಲಿ ಹೀಗೆಂದು ಪ್ರಾರ್ಥಿಸಿದಳು: "ಸರ್ವಶಕ್ತರಾದ ಸರ್ವೇಶ್ವರ, ನಿಮ್ಮ ದಾಸಿಯಾದ ನನ್ನ ದುಃಖವನ್ನು ನೀಗಿಸಿರಿ; ನನ್ನನ್ನು ಪರಾಂಬರಿಸಿರಿ; ನನ್ನನ್ನು ತಿರಸ್ಕರಿಸದೆ ಕನಿಕರ ಪಟ್ಟು ನನಗೊಬ್ಬ ಮಗನನ್ನು ಅನುಗ್ರಹಿಸಿರಿ. ಅವನನ್ನು ಅಮರಣಾಂತರ ನಿಮಗೆ ಸರ್ಮಪಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಬರಗೊಡುವುದಿಲ್ಲ ಎಂದು ಹರಕೆ ಮಾಡುತ್ತೇನೆ." ಹನ್ನಳು ಬಹಳ ಹೊತ್ತಿನವರೆಗೆ ಸರ್ವೇಶ್ವರನ ಮುಂದೆ ಪ್ರಾರ್ಥನೆ ಸಲ್ಲಿಸುತ್ತಾ ಇದ್ದಳು. ಏಲಿ ಆಕೆಯ ಬಾಯನ್ನು ಗಮನಿಸಿದನು. ಆಕೆ ಹೃದಯಾಂತರಾಳದಿಂದ ಪ್ರಾರ್ಥಿಸುತ್ತಾ ಇದ್ದಳು; ತುಟಿಗಳು ಅಲುಗಾಡುತ್ತಿದ್ದವು. ಶಬ್ಧ ಮಾತ್ರ ಕೇಳಿಸುತ್ತಿರಲಿಲ್ಲ. ಆದುದ್ದರಿಂದ ಇವಳು  ಕುಡಿದಿರಬೇಕೆಂದು ತಿಳಿದು, "ನಿನ್ನ ಕುಡಿತದ ಅಮಲು ಇನ್ನು ಇಳಿಯಲಿಲ್ಲವೇ? ದ್ರಾಕ್ಷಾರಸದ ನಿಶೆ ನಿನ್ನನ್ನು ಬಿಟ್ಟು ಹೋಗಲಿ". ಎಂದನು. ಆಕೆ, "ಇಲ್ಲ ಸ್ವಾಮಿ, ನಾನು ಕುಡಿದಿಲ್ಲ, ನಾನು ಬಹಳ ದುಃಖಪೀಡಿತಳು; ದ್ರಾಕ್ಷರಸವನ್ನಾಗಲಿ ಬೇರೆ ಯಾವ ಮದ್ಯಯವನ್ನಾಗಲಿ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಸರ್ವೇಶ್ವರನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ. ನಿಮ್ಮ ದಾಸಿಯಾದ ನನ್ನ ಅಯೋಗ್ಯಳೆಂದು ನೆನೆಸಬೇಡಿ. ಈವರೆಗೂ ನನ್ನ ಅತಿಯಾದ ಚಿಂತೆಯನ್ನು ವ್ಯಥೆಯನ್ನು ಅರಿಕೆ ಮಾಡುಕೊಳ್ಳುತ್ತಿದ್ದೆ," ಎಂದು ಹೇಳಿದಳು. ಆಗ ಏಲಿ ಆಕೆಗೆ, "ಸಮಾಧಾನದಿಂದ ಹೋಗು. ಇಸ್ರಯೇಲಿನ ದೇವರು ನಿನ್ನ ಪ್ರಾರ್ಥನೆಯನ್ನು ಈಡೇರಿಸಲಿ,"  ಎಂದನು. "ನಿಮ್ಮ ದಾಸಿಯಾದ ನನ್ನ ಮೇಲೆ ಕರುಣೆ ಇರಲಿ," ಎಂದು ಹೇಳಿ ಆಕೆ ಅಲ್ಲಿಂದ ಹೊರಟು ಹೋಗಿ ಊಟ ಮಾಡಿದಳು. ಬಳಿಕ ಅವಳ ದುಃಖ ದೂರವಾಯಿತು. ಮಾರನೆಯ ದಿನ ಬೆಳಿಗ್ಗೆ ಅವರೆಲ್ಲರು ಎದ್ದು ಸರ್ವೇಶ್ವರನನ್ನು ಆರಾಧಿಸಿ ರಾಮಾದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಾಳನ್ನು ಕೂಡಲು ಆಕೆ ಸರ್ವೇಶ್ವರನ ಅನುಗ್ರಹದಿಂದ ಗರ್ಭಿಣಿಯಾದಳು. ದಿನ ತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು, "ನಾನು ಇವನನ್ನು ಸರ್ವೇಶ್ವರನಿಂದ ಬೇಡಿ ಪಡೆದೆ," ಎಂದು ಹೇಳಿ ಆ ಮಗುವಿಗೆ ’ಸಮುವೇಲ’ ಎಂದು ಹೆಸರಿಟ್ಟಳು.

ಕೀರ್ತನೆ: 1 ಸಮುವೇಲ 2:1, 4-5, 6-7, 8-10
ಶ್ಲೋಕ: ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲಿ.

ಶುಭಸಂದೆಷ: ಮಾರ್ಕ: 1: 21-28

ಯೇಸುಸ್ವಾಮಿಯು ಶಿಷ್ಯರೊಂದಿಗೆ ಕಫೆರ್ನವುಮ್ ಎಂಬ ಊರನ್ನು ಸೇರಿದರು. ಸಬ್ಬತ್ ದಿನ ಬಂದ ಕೂಡಲೇ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಬಂದು ಹೀಗೆ ಬೋಧಿಸತೊಡಗಿದರು. ಅವರ ಉಪದೇಶವನ್ನು ಕೇಳಿ ಜನರು ಬೆರಗಾದರು. ಏಕೆಂದರೆ ಯೇಸು, ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಾಣಿಯಿಂದ ಪ್ರಬೋಧಿಸುತ್ತಿದ್ದರು. ಅಲ್ಲಿ ದೆವ್ವ ಹಿಡಿದ ಒಬ್ಬನಿದ್ದನು. ಅವನು, "ನಜ಼ರೇತಿನ ಯೇಸುವೇ, ನಿಮಗೇಕೆ ನಮ್ಮ ಗೊಡವೆ? ನೀವು ನಮ್ಮ ವಿನಾಶಕ್ಕಾಗಿ ಬಂದವರೇನು? ನೀವು ಯಾರೆಂದು ನನಗೆ ಗೊತ್ತು. ದೇವರಿಂದ ಬಂದ ಪರಪೂಜ್ಯರು ನೀವು," ಎಂದು ಕಿರುಚಿದನು. ಆದರೆ ಯೇಸುಸ್ವಾಮಿ ಅವನನ್ನು ಗದರಿಸಿ, "ಸುಮ್ಮನಿರು, ಇವನನ್ನು ಬಿಟ್ಟು ತೊಲಗು," ಎಂದು ಆ ದೆವ್ವಕ್ಕೆ ಆಜ್ಞಾಪಿಸಿದರು. ದೆವ್ವವು ಆ ಮನುಷ್ಯನನ್ನು ಒದ್ದಾಡಿಸಿ ಗಟ್ಟಿಯಾಗಿ ಚೀರುತ್ತಾ ಅವನನ್ನು ಬಿಟ್ಟು ಹೋಯಿತು. ಜನರೆಲ್ಲರು ಆಶ್ವರ್ಯಚಕಿತರಾದರು. "ಇದೇನು ಹೊಸ ಬೋಧನೆ!? ಈತ ದೆವ್ವಗಳಿಗೆ ಕೂಡ ಅಧಿಕಾರದಿಂದ ಆಜ್ಞಾಪಿಸುತ್ತಾನೆ’ ಅವು ಈತ ಹೇಳಿದ ಹಾಗೆ ಕೇಳುತ್ತವೆಯಲ್ಲ!" ಎಂದು ಪರಸ್ಪರ ಮಾತಾಡಿಕೊಂಡರು. ಕೂಡಲೇ ಗಲಿಲೇಯ ಪ್ರಾಂತ್ಯದ ಎಲ್ಲೆಡೆಗೂ ಯೇಸುವಿನ ಸಮಾಚಾರ ಹಬ್ಬಿ ಹರಡಿತು.