08.02.24 - "ನಿಶ್ಚಿಂತೆಯಿಂದ ಮನೆಗೆ ಹಿಂದಿರುಗು. ದೆವ್ವ ನಿನ್ನ ಮಗಳನ್ನು ಬಿಟ್ಟು ತೊಲಗಿದೆ,”

ಮೊದಲನೇ ವಾಚನ: 1 ಅರಸುಗಳು 11:4-13

ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯ ದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿಟ್ಟಿದ್ದ ಯಥಾರ್ಥ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ. ಸಿದೋನ್ಯರ ಅಷ್ಟೋರೆತ್ ದೇವತೆಯನ್ನೂ ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನೂ ಆರಾಧಿಸತೊಡಗಿದನು. ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು; ಅವನ ತಂದೆ ದಾವೀದನು ಪೂರ್ಣ ಮನಸ್ಸಿನಿಂದ ಸರ್ವೇಶ್ವರನನ್ನು ಸೇವೆ ಮಾಡಿದಂತೆ ಅವನು ಸೇವೆ ಮಾಡಲಿಲ್ಲ. ಅವನು ಜೆರುಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾ ಸ್ಥಳಗಳನ್ನು ಏರ್ಪಡಿಸಿದನು. ಅವನು ಜೆರುಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾ ಸ್ಥಳಗಳನ್ನು ಏರ್ಪಡಿಸಿದನು. ಈ ಪ್ರಕಾರ ಅನ್ಯ ಜನಾಂಗಗಳಿಂದ ಬಂದ ತನ್ನ ಹೆಂಡತಿಯರು ತಮ್ಮ ದೇವತೆಗಳಿಗೆ ಧೂಪಾರತಿ ಎತ್ತುವುದಕ್ಕೂ ಬಲಿ ಅರ್ಪಿಸುವುದಕ್ಕೂ ಅನುಕೂಲ ಮಾಡಿಕೊಟ್ಟನು. ಸೊಲೊಮೋನನಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರ ಎರಡು ಸಾರಿ ಕಾಣಿಸಿಕೊಂಡು, ಅನ್ಯ ದೇವತೆಗಳನ್ನು ಪೂಜಿಸಲೇಬಾರದೆಂದು ಆಜ್ಞಾಪಿಸಿದ್ದರೂ ಅವನು ಅವರ ಆಜ್ಞೆಗಳನ್ನು ಮೀರಿದನು. ಆದ್ದರಿಂದ ಸರ್ವೇಶ್ವರ ಅವನ ಮೇಲೆ ಕೋಪಗೊಂಡು, “ನೀನು ಹೀಗೆ ಮಾಡಿ ನನ್ನ ನಿಬಂಧನೆಗಳನ್ನು ವಿೂರಿದ್ದರಿಂದ ನಿನ್ನ ರಾಜ್ಯವನ್ನು ಕಿತ್ತುಕೊಂಡು ನಿನ್ನ ದಾಸನಿಗೆ ಕೊಡುವೆನು. ಆದರೂ ನಾನು ನಿನ್ನ ತಂದೆ ದಾವೀದನನ್ನು ಸ್ಮರಿಸಿ, ನಿನ್ನ ಕಾಲದಲ್ಲಿ ಇದನ್ನು ಮಾಡುವುದಿಲ್ಲ. ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು. ಆದರೆ ಇಡೀ ಸಾಮ್ರಾಜ್ಯವನ್ನು ಕಿತ್ತುಕೊಳ್ಳುವುದಿಲ್ಲ; ನನ್ನ ದಾಸ ದಾವೀದನ ನಿಮಿತ್ತ ಹಾಗು ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣದ ನಿಮಿತ್ತ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು,” ಎಂದು ಸರ್ವೇಶ್ವರ ಹೇಳಿದರು.

ಕೀರ್ತನೆ: 106:3-4, 35-36, 37, 40

ಶ್ಲೋಕ: ಮರೆಯಬೇಡೆನ್ನನು ಪ್ರಭೂ, ನಿನ್ನ ಪ್ರಜೆಗೆ ದಯೆತೋರುವಾಗ

ಶುಭಸಂದೇಶ: ಮಾರ್ಕ 7:24-30


ಯೇಸುಸ್ವಾಮಿ ಅಲ್ಲಿಂದ ಹೊರಟು ಟೈರ್ ಹಾಗೂ ಸಿದೋನ್ ಪಟ್ಟಣಗಳ ಸಮೀಪವಿದ್ದ ಪ್ರದೇಶಕ್ಕೆ ಹೋಗಿ ಒಂದು ಮನೆಯಲ್ಲಿ ಇಳಿದುಕೊಂಡರು. ತಾವು ಜನರ ಕಣ್ಣಿಗೆ ಬೀಳಬಾರದೆಂಬುದು ಅವರ ಇಚ್ಛೆಯಾಗಿದ್ದರೂ ಅದು ಸಾಧ್ಯವಾಗಲಿಲ್ಲ. ಹೊರನಾಡಾದ ಸಿರಿಯ ದೇಶದ ಫೆನಿಷ್ಯ ಪ್ರಾಂತ್ಯಕ್ಕೆ ಸೇರಿದ ಗ್ರೀಕ್ ಮಹಿಳೆ ಒಬ್ಬಳು ಅವರ ವಿಷಯವನ್ನು ಕೇಳಿ, ಒಡನೆ ಅಲ್ಲಿಗೆ ಬಂದು ಅವರ ಪಾದಕ್ಕೆರಗಿದಳು. ಆಕೆಯ ಚಿಕ್ಕಮಗಳಿಗೆ ದೆವ್ವ ಹಿಡಿದಿತ್ತು. ತನ್ನ ಮಗಳಿಂದ ಪಿಶಾಚಿಯನ್ನು ಹೊರಗಟ್ಟಬೇಕೆಂದು ಆಕೆ ಯೇಸುವನ್ನು ಬೇಡಿಕೊಂಡಳು. ಆದರೆ ಯೇಸು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಪಡೆಯಲಿ, ಮಕ್ಕಳ ಆಹಾರವನ್ನು ನಾಯಿಗಳಿಗೆ ಎಸೆಯುವುದು ಸರಿಯಲ್ಲ,” ಎಂದರು. ಅದಕ್ಕೆ ಆಕೆ, “ಅದು ನಿಜ ಸ್ವಾವಿೂ; ಆದರೂ ಮಕ್ಕಳು ತಿಂದುಬಿಟ್ಟ ಚೂರುಪಾರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನುತ್ತವಲ್ಲವೆ?” ಎಂದಳು. ಆಕೆಯ ಮಾತುಗಳನ್ನು ಕೇಳಿ ಯೇಸು, “ಚೆನ್ನಾಗಿ ಹೇಳಿದೆ, ನಿಶ್ಚಿಂತೆಯಿಂದ ಮನೆಗೆ ಹಿಂದಿರುಗು. ದೆವ್ವ ನಿನ್ನ ಮಗಳನ್ನು ಬಿಟ್ಟು ತೊಲಗಿದೆ,” ಎಂದರು. ಆಕೆ ಮನೆಗೆ ಹೋದಾಗ, ಮಗಳು ಹಾಸಿಗೆಯ ಮೇಲೆ ಸುಖವಾಗಿ ಮಲಗಿರುವುದನ್ನು ಕಂಡಳು. ದೆವ್ವ ಅವಳನ್ನು ಬಿಟ್ಟು ಹೋಗಿತ್ತು. 

07.02.24 - "ಕೇಡುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ, ಅವನನ್ನು ಅಶುದ್ಧ ಮಾಡುತ್ತವೆ,”

ಮೊದಲನೇ ವಾಚನ: 1 ಅರಸುಗಳು 10:1-10

ಸರ್ವೇಶ್ವರನ ನಾಮ ಮಹತ್ತಿನಿಂದ ಸೊಲೊಮೋನನ ಕೀರ್ತಿ ಹರಡಿತು. ಇದನ್ನು ಕೇಳಿದ ಶೆಬದ ರಾಣಿ ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕೆ ಬಂದಳು. ಆಕೆ ಸುಗಂಧ ದ್ರವ್ಯ, ಅಪರಿಮಿತವಾದ ಬಂಗಾರ, ರತ್ನ, ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಜೆರುಸಲೇಮಿಗೆ ಬಂದಳು. ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು. ಸೊಲೊಮೋನನು ಆಕೆಯ ಎಲ್ಲಾ ಪ್ರಶ್ನೆಗಳಿಗೆ ಉತ್ತರಕೊಟ್ಟನು; ಅರಸನಿಗೆ ಬಿಡಿಸಲು ಕ್ಷಿಷ್ಟವಾದ ಒಗಟು ಒಂದೂ ಇರಲಿಲ್ಲ. ಶೆಬದ ರಾಣಿ ಸೊಲೊಮೋನನ ಹಲವಿಧವಾದ ಜ್ಞಾನೋಕ್ತಿಗಳನ್ನು ಕೇಳಿದಳು; ಅವನು ಕಟ್ಟಿಸಿದ ಅರಮನೆ, ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನು ಮತ್ತು ಸರ್ವೇಶ್ವರನ ಆಲಯದಲ್ಲಿ ಅವನು ಸಮರ್ಪಿಸುತ್ತಿದ್ದ ದಹನಬಲಿಗಳನ್ನು ನೋಡಿದಳು. ಇವುಗಳಿಂದ ಆಶ್ಚರ್ಯಚಕಿತಳಾಗಿ, “ನಾನು ನನ್ನ ದೇಶದಲ್ಲಿ ನಿಮ್ಮ ಜ್ಞಾನವನ್ನೂ ಸಾಧನೆಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ. ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕೆ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ ನಿಮ್ಮ ಜ್ಞಾನ ವೈಭವಗಳು, ನಾನು ಕೇಳಿದ್ದಕ್ಕಿಂತ ಮಿಗಿಲಾಗಿವೆ. ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ವರದಿ ಮಾಡಿರಲಿಲ್ಲ. ನಿಮ್ಮ ಪ್ರಜೆಗಳು ಭಾಗ್ಯವಂತರು! ಸದಾ ನಿಮ್ಮ ಸನ್ನಿಧಿಯಲ್ಲಿದ್ದು ನಿಮ್ಮ ಜ್ಞಾನ ವಾಕ್ಯಗಳನ್ನು ಕೇಳುವ ನಿಮ್ಮ ಸೇವಕರು ಧನ್ಯರು! ನಿಮ್ಮನ್ನು ಮೆಚ್ಚಿ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ಇಸ್ರಯೇಲರನ್ನು ಸದಾ ಪ್ರೀತಿಸುವವರಾಗಿರುವುದರಿಂದ ಆ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನು ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು. ಆಕೆ ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂಗೂ ಹೆಚ್ಚು ಬಂಗಾರವನ್ನು, ಅಪರಿಮಿತ ಸುಗಂಧದ್ರವ್ಯವನ್ನು ಹಾಗು ರತ್ನಗಳನ್ನು ಕೊಟ್ಟಳು. ಶೆಬದ ರಾಣಿ ಅರಸ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಬೇರೆ ಯಾರೂ ಈ ನಾಡಿಗೆ ಕೊಟ್ಟಿರಲಿಲ್ಲ.

ಕೀರ್ತನೆ: 37:5-6, 30-31, 39-40
ಶ್ಲೋಕ: ಸಜ್ಜನರ ಬಾಯಿ ಆಡುವುದು ಸುಜ್ಞಾನವನು

ಶುಭಸಂದೇಶ: ಮಾರ್ಕ 7:14-23

ಅನಂತರ ಯೇಸುಸ್ವಾಮಿ ಜನರ ಗುಂಪನ್ನು ತಮ್ಮ ಬಳಿಗೆ ಕರೆದು, “ನಾನು ಹೇಳುವುದನ್ನು ನೀವೆಲ್ಲರೂ ಕೇಳಿ ಗ್ರಹಿಸಿಕೊಳ್ಳಿ: ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಕಲುಷಿಗೊಳಿಸುವುದಿಲ್ಲ. ಮನುಷ್ಯನ ಅಂತರಂಗದಿಂದ ಹೊರಬರುವಂತಹುದೇ ಅವನನ್ನು ಕಲುಷಿತಗೊಳಿಸುತ್ತದೆ. (ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ)” ಎಂದರು. ಯೇಸು ಜನರ ಗುಂಪನ್ನು ಬಿಟ್ಟು ಮನೆ ಸೇರಿದ ಬಳಿಕ ಶಿಷ್ಯರು, ಅವರ ಬಳಿಗೆ ಬಂದು ಆ ಸಾಮತಿಯ ಅರ್ಥವೇನೆಂದು ಕೇಳಿದರು. ಅದಕ್ಕೆ ಅವರು, “ನೀವು ಕೂಡ ಮಂದಮತಿಗಳೋ? ನಿಮಗೂ ಇದು ಅರ್ಥವಾಗದೋ? ಹೊರಗಿನಿಂದ ಮನುಷ್ಯನ ಒಳಕ್ಕೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ. ಅವನು ತಿಂದದ್ದು ಅವನ ಹೃದಯವನ್ನು ಹೊಕ್ಕದೆ, ಹೊಟ್ಟೆಯನ್ನು ಮಾತ್ರ ಸೇರಿ, ಬಳಿಕ ದೇಹದಿಂದ ವಿಸರ್ಜಿತವಾಗುತ್ತದೆ. (ಹೀಗೆ ಆಹಾರ ಪದಾರ್ಥಗಳು ಯಾವುವೂ ಅಶುದ್ಧವಲ್ಲವೆಂದು ಯೇಸು ಸೂಚಿಸಿದರು.) ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವ ಯೋಚನೆಗಳು ಅವನನ್ನು ಕಲುಷಿತಗೊಳಿಸುತ್ತವೆ. ಮಾನವನ ಹೃದಯಾಂತರಾಳದಿಂದ ದುರಾಲೋಚನೆ, ಅನೈತಿಕತೆ, ಕಳ್ಳತನ, ಕೊಲೆ, ವ್ಯಭಿಚಾರ, ಲೋಭ, ಕೆಡುಕುತನ, ಮೋಸ, ಭಂಡತನ, ಅಸೂಯೆ, ಅಪದೂರು, ಅಹಂಕಾರ, ಮೂರ್ಖತನ ಮೊದಲಾದವು ಹೊರಬರುತ್ತವೆ. ಈ ಎಲ್ಲಾ ಕೇಡುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ, ಅವನನ್ನು ಅಶುದ್ಧ ಮಾಡುತ್ತವೆ,” ಎಂದರು.

06.02.24 - ನೀವು ಬೋಧಿಸುವ ಸಂಪ್ರದಾಯಗಳಿಂದಾಗಿ ದೇವರ ವಾಕ್ಯವನ್ನೇ ನಿರರ್ಥಕಗೊಳಿಸುತ್ತೀರಿ.

ಮೊದಲನೇ ವಾಚನ: 1 ಅರಸುಗಳು 8:22-23, 27-30

ಸೊಲೊಮೋನನು ಇಸ್ರಯೇಲರೆಲ್ಲರ ಎದುರಿನಲ್ಲಿ ಸರ್ವೇಶ್ವರನ ಬಲಿಪೀಠದ ಮುಂದೆ ನಿಂತು, ಆಕಾಶದ ಕಡೆಗೆ ಕೈಗಳನ್ನೆತ್ತಿ, ಹೀಗೆ ಪ್ರಾರ್ಥಿಸಿದನು: “ಇಸ್ರಯೇಲ್ ದೇವರಾದ ಸರ್ವೇಶ್ವರಾ, ಭೂಲೋಕದಲ್ಲೂ ಪರಲೋಕದಲ್ಲೂ ನಿಮಗೆ ಸಮಾನರಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿಮಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಭಕ್ತರ ಬಗ್ಗೆ ನಿಮ್ಮ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿಸುವವರು ನೀವು. “ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ, ಉನ್ನತೋನ್ನತ ಆದ ಆಕಾಶವೂ, ನಿಮ್ಮ ವಾಸಕ್ಕೆ ಸಾಲದು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು? ಆದರೂ ನನ್ನ ದೇವರೇ, ಸರ್ವೇಶ್ವರಾ, ನಿಮ್ಮ ದಾಸನ ಪ್ರಾರ್ಥನೆಗೂ ವಿಜ್ಞಾಪನೆಗೂ ಕಿವಿಗೊಡಿ; ಈ ದಿನ ನಿಮ್ಮನ್ನು ಪ್ರಾರ್ಥಿಸುತ್ತಿರುವ ನಿಮ್ಮ ದಾಸನ ಮೊರೆಯನ್ನು ಆಲಿಸಿರಿ. ಈ ಸ್ಥಳವನ್ನು ಕುರಿತು ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವರೇ, ನಿಮ್ಮ ಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿಮ್ಮ ದಾಸನು ನಿಮ್ಮನ್ನು ಪ್ರಾರ್ಥಿಸುವಾಗಲೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸಿರಿ. ನಿಮ್ಮ ದಾಸನಾದ ನಾನಾಗಲಿ, ನಿಮ್ಮ ಪ್ರಜೆಗಳಾದ ಇಸ್ರಯೇಲರಾಗಲಿ, ಈ ಸ್ಥಳದ ಕಡೆಗೆ ತಿರುಗಿಕೊಂಡು ನಿಮ್ಮನ್ನು ಪ್ರಾರ್ಥಿಸಿದರೆ ನಿಮ್ಮ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸಿರಿ.

ಕೀರ್ತನೆ: 84:3, 4, 5, 10, 11
ಶ್ಲೋಕ: ಪ್ರಭೂ, ನಿನ್ನ ನಿವಾಸಗಳೆನಿತೋ ಸುಂದರ

ಹಂಬಲಿಸಿ ಸೊರಗಿಹೋಗಿದೆ ಎನ್ನ ಮನ|
ಕಾಣಬೇಕೆಂದು ಪ್ರಭುವಿನ ಪ್ರಾಂಗಣ||

ಪ್ರಭು ದೇವಾ, ಎನ್ನರಸ, ಸ್ವರ್ಗಸೇನಾಧೀಶ್ವರ|
ದೊರಕಿದೆ ಗುಬ್ಬಿಗೆ ಗೂಡು ನಿನ್ನ ವೇದಿಕೆಯಹತ್ತಿರ|
ಪಾರಿವಾಳಕ್ಕು ಅಲ್ಲೇ ಇದೆ ಮರಿಯಿಡಲು ಆಗರ||

ನಿನ್ನ ಮಂದಿರದಲಿ ವಾಸಿಸುವವರು ಧನ್ಯರು|
ನಿರಂತರವು ನಿನ್ನ ಗುಣಗಾನ ಮಾಡುವರವರು||

ನಿನ್ನ ಮಂದಿರದಲಿ ಕಳೆದ ದಿನವೊಂದು|
ತಿಳಿವೆನು ಸಾವಿರ ದಿನಕೂ
ಮೇಲೆಂದು||
ದುರುಳರ ಬಿಡಾರದಲಿ ನಾ ವಾಸಮಾಡುವುದರ ಬದಲು|
ನಿನ್ನಾಲಯದ ದ್ವಾರಪಾಲಕನಾಗಿರುವುದೆ ಮೇಲು||

ಘೋಷಣೆ ಕೀರ್ತನೆ148:13,14
ಅಲ್ಲೆಲೂಯ, ಅಲ್ಲೆಲೂಯ!

ಹೊಗಳಲಿ ಇವರೆಲ್ಲರು ಪ್ರಭುವಿನ ನಾಮವನು |
ಖ್ಯಾತಿ ತಂದಿಹನು ತನ್ನ ಭಕ್ತಾಧಿಗಳಿಗೆ ||
ಅಲ್ಲೆಲೂಯ!


ಶುಭಸಂದೇಶ: ಮಾರ್ಕ 7:1-13

ಒಮ್ಮೆ ಫರಿಸಾಯರು ಮತ್ತು ಜೆರುಸಲೇಮಿನಿಂದ ಕೆಲವು ಮಂದಿ ಧರ್ಮಶಾಸ್ತ್ರಿಗಳು ಯೇಸುಸ್ವಾಮಿಯ ಬಳಿಗೆ ಬಂದು ಸೇರಿದರು. ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಎಂದರೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಅವರು ನೋಡಿದರು. ಫರಿಸಾಯರು ಇತರ ಯೆಹೂದ್ಯರಂತೆ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಊಟ ಮಾಡುವುದಿಲ್ಲ. ಇದು ಅವರ ಪೂರ್ವಜರಿಂದ ಬಂದ ಸಂಪ್ರದಾಯ. ಪೇಟೆ ಬೀದಿಗಳಿಗೆ ಹೋಗಿ ಬಂದರೆ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ಸೂತ್ರಬದ್ಧವಾಗಿ ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದುವು. ಆದುದರಿಂದ ಫರಿಸಾಯರೂ ಧರ್ಮಶಾಸ್ತ್ರಿಗಳೂ, “ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟ ಮಾಡುತ್ತಿದ್ದಾರಲ್ಲಾ?” ಎಂದು ಯೇಸುವನ್ನು ಕೇಳಿದರು. ಅದಕ್ಕೆ ಯೇಸು, “ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ: ‘ಬರಿಯ ಮಾತಿನ ಮನ್ನಣೆಯನೀಯುತ, ಹೃದಯವನು ದೂರವಿರಿಸುತ, ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ, ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ! ಎಂದರು ದೇವರು.’ “ನೀವು ದೇವರ ಆಜ್ಞೆಯನ್ನು ತೊರೆದು ಮಾನವನಿರ್ಮಿತ ಸಂಪ್ರದಾಯಗಳನ್ನು ನಿಷ್ಠೆಯಿಂದ ಪರಿಪಾಲಿಸುತ್ತಿದ್ದೀರಿ. ಸಂಪ್ರದಾಯದ ನೆವದಲ್ಲಿ ದೇವರ ಆಜ್ಞೆಗಳನ್ನು ನೀವು ಜಾಣ್ಮೆಯಿಂದ ಬದಿಗೊತ್ತಿರುವುದು ಬಲು ಚೆನ್ನಾಗಿದೆ! ‘ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು; ತಂದೆಯನ್ನಾಗಲೀ ತಾಯಿಯನ್ನಾಗಲೀ ದೂಷಿಸುವವನಿಗೆ ಮರಣದಂಡನೆ ಆಗಲೇಬೇಕು,’ ಎಂಬುದು ಮೋಶೆ ವಿಧಿಸಿದ ಆಜ್ಞೆ. ನೀವಾದರೋ, ಒಬ್ಬನು ತನ್ನ ತಂದೆಗೆ ಅಥವಾ ತಾಯಿಗೆ ‘ನನ್ನಿಂದ ನಿಮಗೆ ಸಲ್ಲತಕ್ಕದ್ದು “ಕೊರ್ಬಾನ್” (ಎಂದರೆ ದೇವರಿಗೆ ಮುಡಿಪು) ಎಂದು ಹೇಳಿಬಿಟ್ಟರೆ ಸಾಕು, ಮುಂದೆ ಅವನು ತನ್ನ ತಂದೆತಾಯಿಗಳಿಗೆ ಯಾವ ಸಹಾಯವನ್ನೂ ಮಾಡುವುದಕ್ಕೆ ನೀವು ಬಿಡುವುದಿಲ್ಲ. “ಹೀಗೆ ನೀವು ಬೋಧಿಸುವ ಸಂಪ್ರದಾಯಗಳಿಂದಾಗಿ ದೇವರ ವಾಕ್ಯವನ್ನೇ ನಿರರ್ಥಕಗೊಳಿಸುತ್ತೀರಿ. ಇಂಥಾ ಕೃತ್ಯಗಳು ಇನ್ನೆಷ್ಟೋ!” ಎಂದರು. 

05.02.24 - "ಹಾಗೆ ಮುಟ್ಟಿದವರೆಲ್ಲರೂ ಗುಣಹೊಂದುತ್ತಿದ್ದರು."

ಮೊದಲನೇ ವಾಚನ: 1 ಅರಸುಗಳು 8:1-7, 9-13

ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ದಾವೀದನಗರವಾದ ಸಿಯೋನಿನಿಂದ ದೇವಾಲಯಕ್ಕೆ ತರುವುದಕ್ಕಾಗಿ, ಇಸ್ರಯೇಲರ ಹಿರಿಯರು, ಕುಲಗಳ ನಾಯಕರು, ಇವರೇ ಮೊದಲಾದ ಎಲ್ಲ ಇಸ್ರಯೇಲ್ ಪ್ರಮುಖ ವ್ಯಕ್ತಿಗಳು ಜೆರುಸಲೇಮಿಗೆ, ತನ್ನ ಆಸ್ಥಾನಕ್ಕೆ, ಬರಬೇಕೆಂದು ಅರಸ ಸೊಲೊಮೋನನು ಆಜ್ಞಾಪಿಸಿದನು. ಅಂತೆಯೇ ಆ ಇಸ್ರಯೇಲರೆಲ್ಲರು ಏಳನೆಯ ತಿಂಗಳಾದ ಆಶ್ವಯುಜ ಮಾಸದಲ್ಲಿ ಜಾತ್ರೆಯಾಗಿ ಅರಸ ಸೊಲೊಮೋನನ ಬಳಿಗೆ ಕೂಡಿಬಂದರು. ಇಸ್ರಯೇಲರ ಹಿರಿಯರೆಲ್ಲರು ಹೀಗೆ ಕೂಡಿ ಬಂದಿರಲು ಯಾಜಕರು ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡರು. ಉಳಿದ ಯಾಜಕರೂ ಲೇವಿಯರೂ ದೇವದರ್ಶನದ ಗುಡಾರ ಹಾಗು ಅದರಲ್ಲಿದ್ದ ಪವಿತ್ರ ವಸ್ತುಗಳನ್ನು ಹೊತ್ತರು. ಅರಸ ಸೊಲೊಮೋನನು ಹಾಗು ಅಲ್ಲಿ ಕೂಡಿ ಬಂದಿದ್ದ ಎಲ್ಲ ಇಸ್ರಯೇಲರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಬಲಿದಾನ ಮಾಡಿದರು. ಯಾಜಕರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸುವ ಗರ್ಭಗುಡಿಯಲ್ಲಿ, ಕೆರೂಬಿಗಳ ರೆಕ್ಕೆಗಳ ಕೆಳಗೆ, ಅದಕ್ಕೆ ನೇಮಕವಾದ ಸ್ಥಳದಲ್ಲಿಟ್ಟರು. ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದುದರಿಂದ ಮಂಜೂಷವು ಹಾಗು ಅದರ ಕೋಲುಗಳು ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು. ಮಂಜೂಷದಲ್ಲಿ ಎರಡು ಶಿಲಾಶಾಸನಗಳನ್ನು ಬಿಟ್ಟರೆ, ಬೇರೇನೂ ಇರಲಿಲ್ಲ. ಸರ್ವೇಶ್ವರ ಈಜಿಪ್ಟಿನಿಂದ ಬಂದ ಇಸ್ರಯೇಲರೊಡನೆ ಹೋರೇಬ್ ಬೆಟ್ಟದ ಬಳಿ ಒಡಂಬಡಿಕೆ ಮಾಡಿಕೊಂಡಮೇಲೆ, ಮೋಶೆ ಆ ಶಾಸನಗಳನ್ನು ಅದರಲ್ಲಿ ಇಟ್ಟಿದ್ದನು. ಯಾಜಕರು ಆ ಪರಿಶುದ್ಧ ಸ್ಥಳದಿಂದ ಹೊರಗೆ ಬಂದಕೂಡಲೆ ಮೇಘವು ಸರ್ವೇಶ್ವರನ ಆಲಯವನ್ನು ತುಂಬಿಕೊಂಡಿತು. ಸರ್ವೇಶ್ವರನ ತೇಜಸ್ವಿನಿಂದ ವ್ಯಾಪ್ತವಾಗಿದ್ದ ಆ ಮೇಘವು ಆಲಯವನ್ನು ಆವರಿಸಿಕೊಂಡಿದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾಗಲಿಲ್ಲ. ಆಗ ಸೊಲೊಮೋನನು ಹೀಗೆಂದು ಪ್ರಾರ್ಥಿಸಿದನು: “ಹೇ ಸರ್ವೇಶ್ವರ, ರವಿಯನು ಆಗಸದಲ್ಲಿ ಸ್ಥಿರವಿರಿಸಿದ ನೀವು ಆರಿಸಿಕೊಂಡಿರಿ, ಕರಿಮೋಡದಲಿ ವಾಸಿಸಲು ನಾ ನಿರ್ಮಿಸಿರುವ ಈ ಭವ್ಯ ಮಂದಿರ ನಿಮಗಾಗಲಿ ಶಾಶ್ವತವಾದ ನಿವಾಸ.”

ಕೀರ್ತನೆ: 132:6-7, 8-10
ಶ್ಲೋಕ: ಪ್ರಭೂ, ನಿನ್ನ ವಾಸಸ್ಥಾನವನು ಬಂದು ಸೇರು ಬೇಗನೆ.

ಶುಭಸಂದೇಶ: ಮಾರ್ಕ 6:53-56


ಅವರೆಲ್ಲರು ಸರೋವರವನ್ನು ದಾಟಿ ಗೆನಸರೇತ್ ಊರಿನ ದಡ ಸೇರಿದರು. ಅವರು ದೋಣಿಯನ್ನು ಕಟ್ಟಿ, ಅದರಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುಸ್ವಾಮಿಯ ಗುರುತು ಹಚ್ಚಿದರು. ಒಡನೆ ಸುತ್ತಮುತ್ತಲೆಲ್ಲಾ ಓಡಾಡಿ, ರೋಗಿಗಳನ್ನು ಹಾಸಿಗೆಗಳ ಸಹಿತ ಹೊತ್ತುಕೊಂಡು, ಯೇಸು ಎಲ್ಲೆಲ್ಲಿ ಇದ್ದಾರೆಂದು ಕೇಳಿದರೋ ಅಲ್ಲೆಲ್ಲಾ ಹೋಗತೊಡಗಿದರು. ಯೇಸು ಹಳ್ಳಿಗಳಿಗಾಗಲಿ ಪಟ್ಟಣಪಾಳೆಯಗಳಿಗಾಗಲಿ ಹೋದಾಗಲೆಲ್ಲಾ ಜನರು ರೋಗಿಗಳನ್ನು ಅಲ್ಲಿಯ ಸಂತೆಬೀದಿ ಚೌಕಗಳಿಗೆ ಕರೆ ತರುತ್ತಿದ್ದರು. ಅವರ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಯೇಸುವನ್ನು ಬೇಡಿಕೊಳ್ಳುತ್ತಿದ್ದರು. ಹಾಗೆ ಮುಟ್ಟಿದವರೆಲ್ಲರೂ ಗುಣಹೊಂದುತ್ತಿದ್ದರು.

04.02.24 - “ಅಕ್ಕಪಕ್ಕದ ಊರುಗಳಿಗೆ ಹೋಗೋಣ. ಅಲ್ಲೂ ನಾನು ಶುಭಸಂದೇಶವನ್ನು ಸಾರಬೇಕು. ನಾನು ಬಂದಿರುವುದು ಈ ಉದ್ದೇಶಕ್ಕಾಗಿಯೇ,”

ಮೊದಲನೆಯ ವಾಚನ: ಯೋಬ 7:1-4, 6 - 7;


“ಮಾನವನ ಜೀವನ ಸೈನಿಕರ ಸೇವಾವಧಿಯಂತೆ ಅವನ ದಿನಗಳು ಕಳೆಯುತ್ತವೆ ಜೀತದಾಳಿನ ದಿನಗಳಂತೆ. ನಾನಿರುವೆ ಸಂಜೆಯನು ಬಯಸುವ ದಾಸನಂತೆ ಕೂಲಿಯನು ನಿರೀಕ್ಷಿಸುವ ಕೂಲಿಯಾಳಿನಂತೆ. ನನ್ನ ಪಾಲಿಗೆ ಬಂದಿವೆ ಬೇಸರಿಕೆಯ ಮಾಸಗಳು ನನಗೆ ನೇಮಕವಾಗಿವೆ ಆಯಾಸದ ರಾತ್ರಿಗಳು. ಮಲಗಹೋಗುವಾಗ ‘ಯಾವಾಗ ಏಳುವೆನೋ” ಎನಿಸುತ್ತದೆ ಕಾಳ ರಾತ್ರಿ ಬೆಳೆಯುತ್ತಾ ಹೋಗುತ್ತಿರುತ್ತದೆ ಉದಯದವರೆಗೆ ಅತ್ತಿತ್ತ ಹೊರಳಿ ಸಾಕಾಗುತ್ತದೆ. ನನ್ನ ದಿನಗಳು ಮಗ್ಗದ ಲಾಳಕ್ಕಿಂತ ತ್ವರಿತ ಅವುಗಳಿಗಿದೋ ನಿರೀಕ್ಷೆಯಿಲ್ಲದ ಮುಕ್ತಾಯ. ನೆನೆಸಿಕೊಳ್ಳೋ ದೇವಾ, ನನ್ನ ಜೀವ ಕೇವಲ ಉಸಿರು ನನ್ನ ಕಣ್ಣುಗಳು ಇನ್ನು ಕಾಣವು ನಲಿವು.
ಪ್ರಭುವಿನ ವಾಕ್ಯ

ಕೀರ್ತನೆ: 147: 1, 2-4, 6-7. V. 3

ಶ್ಲೋಕ: ವಾಸಿಮಾಡುವನು ಮುರಿದ ಮನಸ್ಸುಳ್ಳವರನು I

ಕಟ್ಟಿ ಗುಣಪಡಿಸುವನು ಅವರ ಗಾಯಗಳನು II
ನಮ್ಮ ದೇವರನು ಹೊಗಳಿ ಹಾಡುವುದು ಉಚಿತ I
ಆತನ ಸ್ತುತಿ ಮನೋಹರ, ಅದು ಬಲುಸೂಕ್ತ II
ನಿರ್ಮಿಸುತಿಹನು ಪ್ರಭು ಮರಳಿ ಜೆರುಸಲೇಮನು I

ಬಂದು ಸೇರಿಸುತಿಹನು ಚದರಿದ ಇಸ್ರಯೇಲರನು II
ವಾಸಿಮಾಡುವನು ಮುರಿದ ಮನಸ್ಸುಳ್ಳವರನು I
ಕಟ್ಟಿ ಗುಣಪಡಿಸುವನು ಅವರ ಗಾಯಗಳನು II
ನಿಯಮಿಸಿಹನು ತಾರೆಗಳ ಸಂಖ್ಯೆಯನು I
ಇಟ್ಟಿಹನು ಪ್ರತಿಯೊಂದಕೂ ಹೆಸರನು II

ನಮ್ಮ ಪ್ರಭು ಘನವಂತ, ಪರಾಕ್ರಮಿ I
ಅಪರಿಮಿತವಾದುದು ಆತನ ಜ್ಞಾನನಿಧಿ II
ಆಧಾರವಾಗಿಹನು ಪ್ರಭು ದೀನರಿಗೆ I
ತುಳಿದುಬಿಡುವನು ದುರ್ಜನರನು ನೆಲಕೆ II

ಎರಡನೆಯ ವಾಚನ: 1 ಕೊರಿಂಥಿಯರಿಗೆ 9:16 - 19, 22 – 23

ಸಹೋದರರೇ, ಶುಭಸಂದೇಶವನ್ನು ನಾನು ಸಾರುತ್ತಿದ್ದೇನೆಂದು ಕೊಚ್ಚಿಕೊಳ್ಳುವುದಕ್ಕೂ ನನಗೆ ಆಸ್ಪದವಿಲ್ಲ. ಏಕೆಂದರೆ, ಸಾರಲೇಬೇಕೆಂಬ ಕರ್ತವ್ಯಕ್ಕೆ ನಾನು ಬದ್ಧನಾಗಿದ್ದೇನೆ. ಸಾರದಿದ್ದರೆ ನನಗೆ ಧಿಕ್ಕಾರವಿರಲಿ! ನಾನು ಸ್ವಂತ ಇಷ್ಟದಿಂದ ಈ ಕಾರ್ಯವನ್ನು ಕೈಗೊಂಡಿದ್ದರೆ ತಕ್ಕ ಸಂಭಾವನೆ ಇರುತ್ತಿತ್ತು. ಆದರೆ ಈ ಕರ್ತವ್ಯವನ್ನು ನನಗೆ ವಹಿಸಲಾಗಿದೆ. ಆದ್ದರಿಂದ ಕರ್ತವ್ಯಬದ್ಧನಾಗಿ ಮಾಡುತ್ತಿದ್ದೇನೆ. ಹಾಗಾದರೆ ನನಗೆ ಸಿಗುವ ಸಂಭಾವನೆಯಾದರೂ ಏನು? ಶುಭಸಂದೇಶವನ್ನು ಸಾರುವಾಗ ಜೀವನೋಪಾಯಕ್ಕಾಗಿ ನನಗಿರುವ ಹಕ್ಕನ್ನು ಬಳಸಿಕೊಳ್ಳದೆ ಉಚಿತವಾಗಿ ಸಾರುವ ಸೌಭಾಗ್ಯವೇ ನನ್ನ ಸಂಭಾವನೆ. ನಾನು ಸ್ವತಂತ್ರನು, ಯಾರಿಗೂ ದಾಸನಲ್ಲ. ಆದರೂ ಆದಷ್ಟು ಜನರನ್ನು ಗಳಿಸಿಕೊಳ್ಳಲೆಂದು ಎಲ್ಲರಿಗೂ ದಾಸನಾದೆ ವಿಶ್ವಾಸದಲ್ಲಿ ದುರ್ಬಲರನ್ನು ಗಳಿಸಿಕೊಳ್ಳಲು ನಾನೂ ದುರ್ಬಲನಂತಾದೆ. ಹೇಗಾದರೂ ಸರಿ, ಕೆಲವರನ್ನಾದರೂ ಉದ್ಧರಿಸಲು ಎಲ್ಲರಿಗೂ ಎಲ್ಲವೂ ಆದೆ. ಶುಭಸಂದೇಶದ ಸೌಭಾಗ್ಯದಲ್ಲಿ ಪಾಲುಗೊಳ್ಳಲೆಂದು ಇದೆಲ್ಲವನ್ನು ಶುಭಸಂದೇಶಕ್ಕಾಗಿಯೇ ಮಾಡುತ್ತೇನೆ. 
ಪ್ರಭುವಿನ ವಾಕ್ಯ

ಶುಭಸಂದೇಶ ಮಾರ್ಕ 1:29-39


ಯೇಸುಸ್ವಾಮಿ ಪ್ರಾರ್ಥನಾಮಂದಿರದಿಂದ ಹೊರಟು ಯಕೋಬ ಮತ್ತು ಯೊವಾನ್ನನ ಸಂಗಡ ಸಿಮೋನ ಹಾಗೂ ಅಂದ್ರೆಯನ ಮನೆಗೆ ಹೋದರು. ಸಿಮೋನನ ಅತ್ತೆ ಜ್ವರದಿಂದ ಮಲಗಿದ್ದಳು. ಇದನ್ನು ಯೇಸುವಿಗೆ ತಿಳಿಸಿದರು. ಯೇಸು ಆಕೆಯ ಬಳಿಗೆ ಹೋಗಿ ಕೈಹಿಡಿದು ಎಬ್ಬಿಸಿದರು. ಜ್ವರ ಬಿಟ್ಟುಹೋಯಿತು. ಆಕೆ ಅವರೆಲ್ಲರನ್ನು ಸತ್ಕರಿಸಿದಳು. ಸಂಜೆ ಸೂರ್ಯ ಮುಳುಗಿದ ಮೇಲೆ ಜನರು ರೋಗಿಗಳನ್ನೂ ದೆವ್ವಹಿಡಿದವರನ್ನೂ ಯೇಸುವಿನ ಬಳಿಗೆ ಕರೆತಂದರು. ಊರಿಗೆ ಊರೇ ಆ ಮನೆಯ ಬಾಗಿಲಲ್ಲಿ ನೆರೆಯಿತು. ನಾನಾ ರೋಗಗಳಿಂದ ನರಳುತ್ತಿದ್ದವರನ್ನು ಯೇಸು ಗುಣಪಡಿಸಿದರು. ದೆವ್ವ ಹಿಡಿದವರಿಂದ ದೆವ್ವ ಬಿಡಿಸಿದರು. ತಾವು ಯಾರೆಂಬುದನ್ನು ದೆವ್ವಗಳು ಅರಿತಿದ್ದುದರಿಂದ ಯೇಸು ಅವುಗಳಿಗೆ ಮಾತನಾಡಲು ಅವಕಾಶಕೊಡಲಿಲ್ಲ. ಮುಂಜಾನೆ ಬೆಳಕುಹರಿಯುವ ಮುನ್ನ ಯೇಸುಸ್ವಾಮಿ ಎದ್ದು ಏಕಾಂತ ಪ್ರದೇಶಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದರು. 36ಇತ್ತ, ಸಿಮೋನನೂ ಅವನ ಜೊತೆಗಾರರೂ ಯೇಸುವನ್ನು ಹುಡುಕಿಕೊಂಡು ಹೋದರು. ಅವರನ್ನು ಕಂಡಕೂಡಲೇ, “ಎಲ್ಲರು ತಮ್ಮನ್ನೇ ಹುಡುಕುತ್ತಿದ್ದಾರೆ,” ಎಂದು ತಿಳಿಸಿದರು. ಅದಕ್ಕೆ ಯೇಸು, “ಅಕ್ಕಪಕ್ಕದ ಊರುಗಳಿಗೆ ಹೋಗೋಣ. ಅಲ್ಲೂ ನಾನು ಶುಭಸಂದೇಶವನ್ನು ಸಾರಬೇಕು. ನಾನು ಬಂದಿರುವುದು ಈ ಉದ್ದೇಶಕ್ಕಾಗಿಯೇ,” ಎಂದರು. ಅನಂತರ ಯೇಸು ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾಮಂದಿರಗಳಲ್ಲಿ ಪ್ರಬೋಧಿಸುತ್ತಾ ದೆವ್ವಗಳನ್ನು ಬಿಡಿಸುತ್ತಾ ಬಂದರು.

ಪ್ರಭುವಿನ ಶುಭಸಂದೇಶ

03.02.24

ಮೊದಲನೆಯ ವಾಚನ: 1 ಅರಸರುಗಳ 3:4-13

ಒಮ್ಮೆ ಆರಸ ಸೊಲೊಮೋನನು ಬಲಿಯರ್ಪಿಸುವುದಕ್ಕಾಗಿ, ಪೂಜಾಸ್ಥಳಗಳಲ್ಲೇ ಪ್ರಾಮುಖ್ಯವಾದ ಗಿಬ್ಯೋನಿಗೆ ಹೋದನು. ಅಲ್ಲಿಯ ಪೀಠದ ಮೇಲೆ ಸಹಸ್ರ ಬಲಿಗಳನ್ನು ಸಮರ್ಪಿಸಿದಾಗ, ದೇವರಾದ ಸರ್ವೇಶ್ವರ ಆ ರಾತ್ರಿ ಕನಸಿನಲ್ಲಿ ಕಾಣಿಸಿಕೊಂಡರು; " ನಿನಗೆ ಯಾವ ವರ ಬೇಕು ಕೇಳಿಕೋ, " ಎಂದು ಹೇಳಿದರು. ಸೊಲೋಮೋನನು, "ನಿಮಗೆ ಪ್ರಮಾಣಿಕನಾಗಿ ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ನೀವು ಮಹಾಕೃಪೆಯನ್ನು ತೋರಿಸಿದಿರಿ; ಆ ಕೃಪೆಯನ್ನು ಮುಂದುವರಿಸುತ್ತಾ ಈಗ ಅವರ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿ ಅದನ್ನು ಸಂಪೂರ್ಣಗೊಳಿಸಿದ್ದೀರಿ. ನನ್ನ ದೇವರಾದ ಸರ್ವೇಶ್ವರಾ, ನನ್ನ ತಂದೆಗೆ ಬದಲಾಗಿ ನಿಮ್ಮಿಂದ ಅರಸನಾಗಿ ನೇಮಕಗೊಂಡಿರುವ ನಿಮ್ಮ ದಾಸನಾದ ನಾನು ಇನ್ನೂ ಚಿಕ್ಕವನು. ವ್ಯವಹಾರಜ್ಞಾನ ಇಲ್ಲದವನು; ನಿಮ್ಮ ದಾಸನಾದ ನಾನು ಅಸಂಖ್ಯಾತ ಮಹಾಜನಾಂಗವಾದ ನಿಮ್ಮ ಸ್ವಕೀಯ ಪ್ರಜೆಯ ಮಧ್ಯೆ ಇದ್ದೇನೆ. ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾ ಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ, " ಎಂದು ಬೇಡಿಕೊಂಡನು. ಸೊಲೋಮೋನನು ಈ ಬಿನ್ನಹವನ್ನು ಸರ್ವೇಶ್ವರನಾದ ದೇವರು ಮೆಚ್ಚಿದರು. ಅವರು ಆತನಿಗೆ, " ದೀರ್ಘಾಯುಷ್ಯನಾಗಲಿ, ಸಿರಿಸಂಪತ್ತನ್ನಾಗಲಿ, ಶತ್ರುವಿನಾಶವನ್ನಾಗಲಿ ಕೇಳಿಕೊಳ್ಳಲಿಲ್ಲ. ನ್ಯಾಯನಿರ್ಣಯಿಸುವುದಕ್ಕೆ ಬೇಕಾದ ವಿವೇಕವನ್ನು ಬೇಡಿಕೊಂಡೆ. ಆದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಹಿಂದೆ ಇರಲಿಲ್ಲ, ಮುಂದೆಯೂ ಇರುವುದಿಲ್ಲ. ಇದಲ್ಲದೆ, ನೀನು ಕೇಳುವಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಸಿರಿಸಂಪತ್ತಿನಲ್ಲಿಯೂ ಘನತೆ ಗೌರವದಲ್ಲಿಯೂ ನಿನಗೆ ಸಮಾನನಾದ ಅರಸನು ಇನ್ನೊಬ್ಬನಿರುವುದಿಲ್ಲ, "ಎಂದರು.

ಕೀರ್ತನೆ: 119: 9-10, 11-12,13-14
ಶ್ಲೋಕ: ನಿನ್ನ ಆಜ್ಞೆಗಳನು ಕಲಿಸು ಎನಗೆ |

ನಡತೆಯಲಿ ಶುದ್ದವಿರಲು ಯುವಜನಕೆ ಹೇಗೆ ಸಾಧ್ಯ|
ನಿನ್ನಯ ವಾಕ್ಯಾನುಸರಣೆಯಿಂದಲೇ ಅವರಿಗದು ಸಾಧ್ಯ||
ತುಂಬು ಹೃದಯದಿಂದ ಹಂಬಲಿಸುತ್ತಿರುವೆನಯ್ಯಾ|
ನಿನ್ನಾಜ್ಞೆಯಿಂದ ನಾ ತಪ್ಪದಂತೆ ಕಾಯಯ್ಯಾ||

ನಿನಗೆ ವಿರುದ್ಧ ನಾ ಪಾಪಮಾಡದಂತೆ|
ನಿನ್ನ ನುಡಿಯನು ನನ್ನೆದೆಯಲ್ಲಿರಿಸಿದೆ||
ಸ್ತುತಿ ಸಲ್ಲಲಿ ಪ್ರಭೂ, ನಿನಗೆ|
ನಿನ್ನ ಆಜ್ಞೆಗಳನು ಕಲಿಸು ಎನಗೆ||

ಬಂದುವು ಆ ವಿಧಿಗಳು ನಿನ್ನ ಬಾಯಿಂದ|
ವರ್ಣಿಸುವೆನು ಅವನ್ನು ನನ್ನ ಬಾಯಿಂದ||
ಸಿರಿಸಂಪತಿಗಿಂತ ಮಿಗಿಲಾಗಿ|
ಆನಂದಿಪೆ ನಿನ್ನ ಮಾರ್ಗಿಯಾಗಿ||

ಘೋಷಣೆ: ಕೀರ್ತನೆ 119:105
ಅಲ್ಲೆಲೂಯ, ಅಲ್ಲೆಲೂಯ!

ನಿನ್ನ ವಾಕ್ಯ ನನಗೆ ದಾರಿದೀಪ | ನನ್ನ ಕಾಲಿನ ನಡೆಗೆ ಕೈದೀಪ ||

ಅಲ್ಲೆಲೂಯ!

ಶುಭಸಂದೇಶ: ಮಾರ್ಕ 6:30-34

ಆ ಕಾಲದಲ್ಲಿ ಪ್ರೇಷಿತರು ಯೇಸುವಿನ ಬಳಿಗೆ ಹಿಂದಿರುಗಿ ಬಂದು ತಾವು ಮಾಡಿದ ಸಕಲ ಕಾರ್ಯಕಲಾಪಗಳ ಹಾಗೂ ನೀಡಿದ ಬೋಧನೆಯ ವರದಿಯನ್ನು ಒಪ್ಪಿಸಿದ್ದರು. ಜನರು ಗುಂಪು ಗುಂಪಾಗಿ ಎಡೆಬಿಡದೆ ಬರುತ್ತಾ ಹೋಗುತ್ತಾ ಇದ್ದುದರಿಂದ ಯೇಸುವಿಗೆ ಮತ್ತು ಅವರ ಶಿಷ್ಯರಿಗೆ ಊಟಮಾಡಲೂ ಬಿಡುವಿರಲಿಲ್ಲ. ಆದುದರಿಂದ ಯೇಸು, "ಬನ್ನಿ, ಪ್ರತ್ಯೇಕವಾಗಿ ನಾವು ನಿರ್ಜನ ಪ್ರದೇಶಕ್ಕೆ ಹೋಗಿ ಸ್ವಲ್ಪ ವಿಶ್ರಮಿಸಿಕೊಂಡು ಬರೋಣ, "ಎಂದರು. ಅಂತೆಯೇ ಅವರೆಲ್ಲರೂ ಪ್ರತ್ಯೇಕವಾಗಿ ದೋಣಿಯನ್ನು ಹತ್ತಿ ಏಕಾಂತ ಪ್ರದೇಶಕ್ಕೆ ಹೊರಟರು. ಆದರೆ ಅವರು ಹೋಗುತ್ತಿರುವುದನ್ನು ಕಂಡು ಗುರುತಿಸಿದ ಅನೇಕರು ಎಲ್ಲಾ ಊರುಗಳಿಂದ ಕಾಲ್ದಾರಿಯಲ್ಲಿ ತ್ವರಿತವಾಗಿ ಸಾಗಿ ಅವರಿಗೆ ಮುಂಚಿತವಾಗಿಯೇ ಆ ಸ್ಥಳವನ್ನು ಸೇರಿದರು. ಯೇಸು ದೋಣಿಯಿಂದ ಇಳಿದಾಗ ಅಲ್ಲಿ ದೊಡ್ಡ ಜನಸಮೂಹವೇ ಸೇರಿತ್ತು. ಆ ಜನರು ಕುರುಬನಿಲ್ಲದ ಕುರಿಗಳಂತಿರುವುದನ್ನು ಕಂಡು ಯೇಸುವಿನ ಮನ ಕರಗಿತು; ಅನೇಕ ವಿಷಯಗಳನ್ನು ಕುರಿತು ಅವರಿಗೆ ಉಪದೇಶವಿತ್ತರು.

02.02.24 - "ನಿನ್ನ ಮಾತು ಸರ್ವೇಶ್ವರಾ ನೆರವೇರಿತಿಂದು; ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನು"





ಮೊದಲನೆಯ ವಾಚನ: ಮಲಾಕಿ 3:1-4


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: "ನಾನು ನನ್ನ ದೂತನನ್ನು ಮುಂದಾಗಿ ಕಳಿಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ದಗೊಳಿಸುವನು. ನೀವು ಎದುರುನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು. " ಆದರೆ ಆತನು ಬರುವಾಗ ಆತನನ್ನು ಎದುರುಗೊಳ್ಳಬಲ್ಲವನು ಯಾರು? ಆತನ ದರ್ಶನವನ್ನು ಪಡೆದು ಬದುಕಬಲ್ಲವನು ಯಾರು? ಆತನು ಅಕ್ಕಸಾಲಿಗನ ಕುಲುಮೆಯ ಬೆಂಕಿಗೂ ಅಗಸನ ಚೌಳಿಗೂ ಸಮಾನನು. ಬೆಳ್ಳಿಯನ್ನು ಶುದ್ದೀಕರಿಸುವ ಅಕ್ಕಸಾಲಿಗನಂತೆ ಲೇವಿಯ ವಂಶದವರನ್ನು ಶುದ್ದಗೊಳಿಸುವನು; ಬೆಳ್ಳಿ ಬಂಗಾರದಂತೆ ಶುದ್ದೀಕರಿಸುವನು. ಆಗ ಅವರು ಯೋಗ್ಯವಾದ ಕಾಣಿಕೆಗಳನ್ನು ಸರ್ವೇಶ್ವರಸ್ವಾಮಿಗೆ ತಂದೊಪ್ಪಿಸುವರು. ಪೂರ್ವದಿನಗಳಲ್ಲಿ, ಪುರಾತನ ಕಾಲದಲ್ಲಿ ಇದ್ದಂತೆ ಜೂದಾ ಮತ್ತು ಜೆರುಸಲೇಮಿನ ಜನರ ಕಾಣಿಕೆಗಳು ಆ ಸ್ವಾಮಿಗೆ ಮೆಚ್ಚುಗೆಯಾಗಿರುವುವು.

ಕೀರ್ತನೆ 24:7,8,9,10
ಶ್ಲೋಕ: ಯಾರಿವನು ಮಹಿಮಾವಂತ ರಾಜಾಧಿರಾಜನು? ಇವನೇ ಪ್ರಭು.

ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು|
ತೆರೆದು ಸ್ವಾಗತಿಸಲಿ ಕದಗಳು, ಸನಾತನ ದ್ವಾರಗಳು||

ಯಾರಿವನು ಮಹಿಮಾವಂತ ರಾಜಾಧಿರಾಜನು?|
ಇವನೇ ಪ್ರಭು ಯುದ್ಧವೀರನು, ಶಕ್ತಿಸಮರ್ಥನು||

ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು|
ತೆರೆದು ಸ್ವಾಗತಿಸಲಿ ಕದಗಳು, ಸನಾತನ ದ್ವಾರಗಳು||

ಯಾರಿವನು ಮಹಿಮಾವಂತ ರಾಜಾಧಿರಾಜನು?|
ಇವನೇ ಪ್ರಭು ಸೇನಾಧೀಶ್ವರನು, ಮಹಿಮಾರಾಜನು||

ಎರಡನೆಯ ವಾಚನ: 2 ಹಿಬ್ರಿಯರಿಗೆ  2:14-18

Uploading: 95211 of 95211 bytes uploaded.


ಸಹೋದರರೇ, ಮಕ್ಕಳು ರಕ್ತಮಾಂಸಧಾರಿಗಳಾಗಿರುವುದರಿಂದ ಯೇಸು ಸೈತಾನನನ್ನು ತಮ್ಮ ಕಾರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ್ತ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು. ಅವರು ಉದ್ದಾರ ಮಾಡ ಬಂದುದು ಖಂಡಿತವಾಗಿ ದೇವದೂತರನ್ನಲ್ಲ, ಅಬ್ರಹಾಮನ ಸಂತತಿಯನ್ನು, ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು. ಜನರ ಪಾಪ ನಿವಾರಣೆಗಾಗಿ ದೇವರಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಗಸ್ಥನೂ ಆದ ಪ್ರಧಾನ ಯಾಜಕನಾಗಿರಬೇಕಾಗಿತ್ತು. ಸ್ವತಃ ತಾವೇ ಶೋಧನೆಗೊಳಗಾಗಿ ಯಾತನೆಯನ್ನು ಅನುಭವಿಸಿದ್ದರಿಂದ ಶೋಧನೆಗೊಳಗಾಗುವವರಿಗೆ ನೆರವಾಗಲು ಯೇಸು ಸಮರ್ಥರಾದರು.

ಘೋಷಣೆ ಲೋಕ 2:32
ಅಲ್ಲೆಲೂಯ, ಅಲ್ಲೆಲೂಯ!

ಈತ ಅನ್ಯ ಜನರನ್ನು ಬೆಳಗಿಸುವ ಜ್ಯೋತಿ | ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ ||

ಶುಭಸಂದೇಶ: ಲೂಕ 2:22-40


ಮೋಶೆಯ ನಿಯಮದ ಪ್ರಕಾರ ಸೂಚಕ ದಿನಗಳು ಮುಗಿದು ಶುದ್ದೀಕರಣ ದಿನ ಬಂದಾಗ, ತಂದೆತಾಯಿಗಳು ಆ ಮಗುವನ್ನು ಎತ್ತಿಕೊಂಡು ಜೆರುಸಲೇಮಿಗೆ ಹೋದರು. ಏಕೆಂದರೆ, ಮೊದಲು ಜನಿಸಿದ ಪ್ರತಿಯೊಂದು ಗಂಡು ಮಗುವನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕಾಗಿತ್ತು. ಅಲ್ಲದೆ, ಧರ್ಮಶಾಸ್ತ್ರದಲ್ಲೇ ಉಲ್ಲೇಖಿಸಿರುವಂತೆ ಒಂದು ಜೋಡಿ ಬೆಳವಹಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ಬಲಿಯನ್ನಾಗಿ ಅರ್ಪಿಸಬೇಕಾಗಿತ್ತು. ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು. ಸರ್ವೇಶ್ವರ ಕಳುಹಿಸಲಿರುವ ಅಭಿಷಿಕ್ತನಾದ ಲೋಕೋದ್ಧಾರಕನ ದರ್ಶನವಾಗುವವರಿಗೆ ತನಗೆ ಸಾವಿಲ್ಲವೆಂದು ಪವಿತ್ರಾತ್ಮರಿಂದ ಆಶ್ವಾಸನೆ ಪಡೆದಿದ್ದನು. ಆ ಪವಿತ್ರಾತ್ಮರಿಂದ ಪ್ರೇರಿತನಾಗಿ ಅವನು ಮಹಾದೇವಾಲಯಕ್ಕೆ ಬಂದನು. ಧರ್ಮಶಾಸ್ತ್ರದ ವಿಧಿಯನ್ನು ಪೂರೈಸಲು ಬಾಲಯೇಸುವನ್ನು ತಂದೆತಾಯಿಗಳು ದೇವಾಲಯಕ್ಕೆ ತಂದಾಗ, ಸಿಮೆಯೋನನು ಆ ಮಗುವನ್ನು ತನ್ನ ಕೈಗಳಲ್ಲಿ ಎತ್ತಿಕೊಂಡು ದೇವರನ್ನು ಹೀಗೆಂದು ಸ್ತುತಿಸಿದನು: "ನಿನ್ನ ಮಾತು ಸರ್ವೇಶ್ವರಾ ನೆರವೇರಿತಿಂದು; ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನು, ನೀನಿತ್ತ ಉದ್ಧಾರಕನನು ನಾ ಕಂಡೆ ಕಣ್ಣಾರೆ, ಜನರೆಲ್ಲರ ಸಮ್ಮುಖದಲ್ಲಿ ನೀನೀತನನು ಪ್ರತ್ಯಕ್ಷ ಮಾಡಿರುವೆ. ಈತ ಅನ್ಯ ಜನರನ್ನು ಬೆಳಗಿಸುವ ಜ್ಯೋತಿ, ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ, " ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳನ್ನು ಕೇಳಿ ತಂದೆತಾಯಿಗಳು ಆಶ್ಚರ್ಯಪಟ್ಟರು. ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, "ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು. ನಿನ್ನ ವಿಷಯದಲ್ಲಿ ಹೇಳುವುದಾದರೆ, ದುಃಖವೆಂಬ ಅಲಗೊಂದು ನಿನ್ನ ಅಂತರಂಗವನ್ನು ಸೀಳುವುದು, " ಎಂದು ಹೇಳಿದನು. ಇದಲ್ಲದೆ ಅಲ್ಲಿ ಅಶೇರನ ವಂಶಕ್ಕೆ ಸೇರಿದ ಘನುವೇಲನ ಮಗಳಾದ ಅನ್ನಳೆಂಬ ಪವಾದಿನಿಯಿದ್ದಳು. ಅವಳು ಮುದಿಪ್ರಾಯದವಳು. ಮದೆವೆಯಾಗಿ ಏಳು ವರ್ಷ ಮಾತ್ರ ಗಂಡನೊಡನೆ ಬಾಳಿ ವಿಧವೆಯಾದವಳು. ಅವಳಿಗೆ ಸುಮಾರು ಎಂಭತ್ತನಾಲ್ಕು ವರ್ಷ ವಯಸ್ಸು. ಮಹಾದೇವಾಲಯವನ್ನು ಬಿಟ್ಟು ಅವಳು ಎಲ್ಲಿಗೂ ಹೋಗುತ್ತಿರಲಿಲ್ಲ; ಹಗಲಿರುಳು ಉಪವಾಸ ಪ್ರಾರ್ಥನೆಗಳಿಂದ ದೇವಾರಾಧನೆಯಲ್ಲಿ ನಿರತಳಾಗಿದ್ದಳು. ಅವಳು ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿ, ಜೆರುಸಲೇಮಿನ ವಿಮೋಚನೆಯನ್ನು ಎದುರುನೋಡುತ್ತಿದ್ದ ಅಲ್ಲಿಯವರಿಗೆಲ್ಲಾ ಆ ಶಿಶುವಿನ ವಿಷಯವಾಗಿ ಹೇಳತೊಡಗಿದಳು. ಸರ್ವೇಶ್ವರನ ಧರ್ಮಶಾಸ್ತ್ರಕ್ಕನುಸಾರ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಜೋಸೆಫ್ ಮತ್ತು ಮರಿಯಳು ಗಲಿಲೇಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಗ್ರಾಮವಾದ ನಜರೇತಿಗೆ ಹಿಂದಿರುಗಿದರು. ಬಾಲಕ ಯೇಸು ಬೆಳೆದಂತೆ ಶಕ್ತರೂ ಜ್ಞಾನಸಂಪೂರ್ಣರೂ ಆದರು. ಇದಲ್ಲದೆ ದೈವಾನುಗ್ರಹ ಅವರ ಮೇಲಿತ್ತು.

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...