15.07.24 - "ನಿಮ್ಮನ್ನು ಸ್ವಾಗತಿಸುವವನು ನನ್ನನ್ನು ಸ್ವಾಗತಿಸುತ್ತಾನೆ;"

ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 1:10-17 


ಸೊದೋಮಿನ ಅಧಿಪತಿಗಳಂತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ. ಸ್ವಾಮಿ ಇಂತೆನ್ನುತ್ತಾರೆ : “ನೀವು ಅರ್ಪಿಸುವ ಅಸಂಖ್ಯಾತ ಬಲಿದಾನಗಳಿಂದ ನನಗೇನು ಪ್ರಯೋಜನ? ಟಗರುಗಳು, ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು ಇವೆಲ್ಲ ನನಗೆ ಬೇಸರ. ಹೋತಹೋರಿಗಳ, ಕುರಿಮರಿಗಳ ರಕ್ತ ನನಗೆ ತಾತ್ಸಾರ. ನನ್ನ ಸನ್ನಿಧಾನಕ್ಕೆ ಬರುವಾಗ ಇದನ್ನೆಲ್ಲ ತರಬೇಕೆಂದು ನಿಮಗೆ ಹೇಳಿದವರಾರು? ನಿಮ್ಮ ನೈವೇದ್ಯಗಳನ್ನು ಇನ್ನು ತರಬೇಡಿ, ಅವು ವ್ಯರ್ಥ. ನಿಮ್ಮ ಧೂಪಾರತಿ ನನಗೆ ಅಸಹ್ಯ. ನೀವು ಆಚರಿಸುವ ಹಬ್ಬ ಹುಣ್ಣಿಮೆ, ಸಬ್ಬತ್ ವಿಶ್ರಾಂತಿ, ನಿಮ್ಮ ಸಭೆಕೂಟಗಳು ನನಗೆ ಬೇಡ. ಅಧರ್ಮದಿಂದ ಕೂಡಿದ ಇಂಥ ಸಮಾರಂಭಗಳು ನನಗೆ ಇಷ್ಟವಿಲ್ಲ. ನಿಮ್ಮ ಹಬ್ಬ ಹುಣ್ಣಿಮೆಗಳು, ಉತ್ಸವ ದಿನಗಳು ನನ್ನ ಮನಕ್ಕೆ ವಿರುದ್ಧ, ಹೊರಲಾಗದ ಭಾರ, ಸಹಿಸಲಾಗದ ಬೇಸರ. ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ. ತೊಳೆದುಕೊಳ್ಳಿರಿ, ನಿಮ್ಮನ್ನೆ ಶುದ್ಧಮಾಡಿಕೊಳ್ಳಿರಿ. ಕಣ್ಣಿಗೆ ಕಟ್ಟಿದಂತಿರುವ ನಿಮ್ಮ ದುಷ್ಕೃತ್ಯಗಳು ನೀಗಿಹೋಗಲಿ. ಕೇಡನ್ನು ಬಿಟ್ಟು ಒಳಿತನ್ನು ಕೈಗೊಳ್ಳಿರಿ. ನ್ಯಾಯನೀತಿಗಳಲ್ಲಿ ನಿರತರಾಗಿರಿ. ಹಿಂಸಾತ್ಮಕರನ್ನು ತಿದ್ದಿ ಸರಿಪಡಿಸಿರಿ. ಅನಾಥರಿಗೆ ನ್ಯಾಯ ದೊರಕಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.

ಕೀರ್ತನೆ: 50:8-9, 16-17, 21, 23
ಶ್ಲೋಕ: ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ದಾರವನು

ನಿನ್ನ ಬಲಿಯರ್ಪಣೆಯನು ನಾ ತಪ್ಪೆಣಿಸುತ್ತಿಲ್ಲ|
ನನ್ನ ಮುಂದಿದೆ ಸತತ ನಿನ್ನ ದಹನಬಲಿಗಳೆಲ್ಲ||
ನಾ ಕೋರುವುದು ನಿನ್ನ ಮನೆಯ ಹೋರಿಗಳನಲ್ಲ|
ನಾ ಬಯಸುವುದು ನಿನ್ನ ಮಂದೆಯ ಹೋತಗಳನ್ನಲ್ಲ||

ನನ್ನ ವಿಧಿಗಳ ಪಠಿಸುವ ಹಕ್ಕು ನಿಮಗೆಂತು?|
ನನ್ನ ನಿಬಂಧನೆಗಳ ನೀವು ಜಪಿಸುವುದೆಂತು||
ನನ್ನ ಮಾತುಗಳನು ನೀವು ತಾತ್ಸಾರ ಮಾಡುತ್ತೀರಿ|
ನನ್ನ ತಿದ್ದುಪಾಟುಗಳನು ನೀವು ಧಿಕ್ಕರಿಸುತ್ತೀರಿ||

ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ?|
ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ?||
ಧನ್ಯವಾದದ ಬಲಿಯರ್ಪಿಸುವವನೇ ನನಗೆ ಸನ್ಮಾನಿತನು|
ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ದಾರವನು||

ಘೋಷಣೆ ಕೀರ್ತನೆ 119:34
ಅಲ್ಲೆಲೂಯ, ಅಲ್ಲೆಲೂಯ!

ನೀಡೆನಗೆ ನಿನ್ನ ಶಾಸ್ತ್ರದ ಅರಿವನು | ಪೂರ್ಣಮನದಿಂದ ಆಚರಿಸುವೆನದನು ||
ಅಲ್ಲೆಲೂಯ!

ಶುಭಸಂದೇಶ: ಮತ್ತಾಯ 10:34--11:1

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆನೆಂದು ಭಾವಿಸಬೇಡಿ; ಸಮಾಧಾನವನ್ನಲ್ಲ, ಛೇದಿಸುವ ಖಡ್ಗವನ್ನು ತರಲು ಬಂದೆನು. ತಂದೆಗೆ ವಿರುದ್ಧ ಮಗನಿಗೂ, ತಾಯಿಗೆ ವಿರುದ್ದ ಮಗಳಿಗೂ, ಅತ್ತೆಗೆ ವಿರುದ್ದ ಸೊಸೆಗೂ ಭೇದ ಹುಟ್ಟಿಸಲು ಬಂದೆನು; ಒಡಹುಟ್ಟಿದವರೇ ಒಬ್ಬನ ಕಡುವೈರಿಗಳಾಗುವರು. "ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆಯನ್ನು ಅತವಾ ತಾಯಿಯನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಅಥವಾ ಮಗಳನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ತನ್ನ ಶಿಲುಬೆಯನ್ನು ಹೊತ್ತು ನನ್ನನ್ನು ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ. ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗೋಸ್ಕರವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಾಪಾಡಿಕೊಳ್ಳುತ್ತಾನೆ. "ನಿಮ್ಮನ್ನು ಸ್ವಾಗತಿಸುವವನು ನನ್ನನ್ನು ಸ್ವಾಗತಿಸುತ್ತಾನೆ; ನನ್ನನ್ನು ಸ್ವಾಗತಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವಾಗತಿಸುತ್ತಾನೆ. ಪ್ರವಾದಿಯನ್ನು ಪ್ರವಾದಿಯೆಂದು ಸ್ವಾಗತಿಸುವವನು ಪ್ರವಾದಿಗೆ ಸಿಗುವ ಪ್ರತಿಫಲವನ್ನು ಪಡೆಯುತ್ತಾನೆ. ಸತ್ಪುರುಷನನ್ನು ಸತ್ಪುರುಷನೆಂದು ಸ್ವಾಗತಿಸುವವನು ಸತ್ಪುರುಷನಿಗೆ ಸಿಗುವ ಪ್ರತಿಫಲವನ್ನು ಪಡೆಯುತ್ತಾನೆ. ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆ ಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ." ಯೇಸುಸ್ವಾಮಿ ತಮ್ಮ ಹನ್ನೆರಡು ಮಂದಿ ಶಿಷ್ಯರಿಗೆ ಆದೇಶವನ್ನು ಕೊಟ್ಟಾದ ಮೇಲೆ ಅಲ್ಲಿಂದ ಹೊರಟು ಉಪದೇಶ ಮಾಡುವುದಕ್ಕೂ ಬೋಧಿಸುವುದಕ್ಕೂ ಹತ್ತಿರದ ಊರುಗಳಿಗೆ ಹೋದರು.

14.07.24 - “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ,”

ಮೊದಲನೇ ವಾಚನ: ಆಮೋಸ 7:12-15

 ಅಮಚ್ಯನು ಆಮೋಸನಿಗೆ, “ಕಣಿಹೇಳುವವನೇ, ತೊಲಗು, ಜುದೇಯ ನಾಡಿಗೆ ಓಡಿಹೋಗು; ಅಲ್ಲಿ ಪ್ರವಾದನೆಮಾಡಿ ಹೊಟ್ಟೆ ಹೊರೆದುಕೊ. ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜನ ಗರ್ಭಗುಡಿ, ರಾಜ್ಯದ ಪವಿತ್ರಾಲಯ,” ಎಂದನು. ಅದಕ್ಕೆ ಆಮೋಸನು ಪ್ರತ್ಯುತ್ತರವಾಗಿ: “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ನಾನೊಬ್ಬ ಗೊಲ್ಲ, ಅತ್ತಿಹಣ್ಣನ್ನು ಕೀಳುವವನು. ಮಂದೆಕಾಯುವುದರಿಂದ ಸರ್ವೇಶ್ವರ ನನ್ನನ್ನು ಬಿಡಿಸಿದರು. ನೀನು ಹೋಗಿ ನನ್ನ ಜನರಾದ ಇಸ್ರಯೇಲರಿಗೆ ಪ್ರವಾದನೆಮಾಡು’ ಎಂದು ಹೇಳಿಕಳುಹಿಸಿದರು.

ಕೀರ್ತನೆ: 85:8-9, 10-11, 12-13
ಶ್ಲೋಕ: ತೋರಿಸೆಮಗೆ ಪ್ರಭು ಕರುಣೆಯನು.

ನಾ ಕೇಳುತ್ತಿರುವೆನು, ಪ್ರಭು ಹೇಳುವುದನು I
ತನ್ನ ಜನರಿಗಾತ ನುಡಿವುದು ಶಾಂತಿಯನು I

ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ I
ಇದರಿಂದಾತನ ಮಹಿಮೆ ನಾಡಿಲ್ಲಿರುವುದು ನಿರುತ II
ಪ್ರೀತಿಯೂ ಸತ್ಯವೂ ಒಂದನ್ನೊಂದು ಕೂಡಿರುವುವು I

ನೀತಿಯೂ ಶಾಂತಿಯೂ ಒಂದನ್ನೊಂದು ಚುಂಬಿಸುವುವು II
ಸತ್ಯತೆಯು ಹುಟ್ಟುವುದು ಭೂಮಿಯಿಂದ I
ನೀತಿಯು ದೃಷ್ಟಿಸುವುದು ಗಗನದಿಂದ II

ಪ್ರಭು ಕೊಟ್ಟೇ ತೀರುವನು ಒಳಿತನು I
ನಮ್ಮ ನಾಡು ನೀಡುವುದು ಬೆಳೆಯನು II
ನಡೆವುದು ಪ್ರಭುವಿನ ಮುಂದೆ ನೀತಿ I
ಮಾಡುವುದು ಆತನ ಹೆಜ್ಜೆಗೆ ಹಾದಿ II


ಎರಡನೆಯ ವಾಚನ: ಎಫೆಸಿಯರಿಗೆ 1:3-14


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ. ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು. ನಮ್ಮ ಮೇಲಿನ ಪ್ರೀತಿಯಿಂದಾಗಿ ದೇವರು ಯೇಸುಕ್ರಿಸ್ತರ ಮೂಲಕ ನಮ್ಮನ್ನು ತಮ್ಮ ಮಕ್ಕಳನ್ನಾಗಿಸಿಕೊಳ್ಳಲು ಆಗಲೇ ನಿರ್ಧರಿಸಿದ್ದರು. ಇದು ಅವರ ಸಂಕಲ್ಪ ಹಾಗೂ ಚಿತ್ತವಾಗಿತ್ತು. ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ. ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ. ದೇವರು ಸಮಗ್ರ ಜ್ಞಾನ-ವಿವೇಕಗಳಿಂದ ತಮ್ಮ ರಹಸ್ಯ ಯೋಜನೆಯನ್ನು ನಮಗೆ ತಿಳಿಯಪಡಿಸಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಅದನ್ನು ಯೇಸುಕ್ರಿಸ್ತರ ಮೂಲಕ ಪರಿಪೂರ್ಣಗೊಳಿಸಬೇಕೆಂಬುದು ಅವರ ಸಂಕಲ್ಪವಾಗಿತ್ತು. ಕಾಲವು ಸಂಪೂರ್ಣಗೊಂಡಾಗ ಇಹಪರಗಳಲ್ಲಿರುವ ಸಮಸ್ತವನ್ನು ಕ್ರಿಸ್ತ ಯೇಸುವಿನಲ್ಲಿ ಒಂದುಗೂಡಿಸುವುದೇ ಈ ಯೋಜನೆಯ ಇಂಗಿತ: ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಆದಕಾರಣ ಯೇಸುಕ್ರಿಸ್ತರಲ್ಲಿ ಮೊತ್ತಮೊದಲು ನಿರೀಕ್ಷೆಯನ್ನಿರಿಸಿದ ನಾವು ದೇವರ ಮಹಿಮೆಯನ್ನು ಸ್ತುತಿಸಿ ಹಾಡಬೇಕು. ನೀವು ಸಹ ಸತ್ಯವಾಕ್ಯವನ್ನು ಅಂದರೆ, ನಿಮಗೆ ಜೀವೋದ್ದಾರವನ್ನೀಯುವ ಶುಭಸಂದೇಶವನ್ನು ಕೇಳಿ ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಟ್ಟಿರಿ. ದೇವರು ವಾಗ್ದಾನಮಾಡಿದ ಪವಿತ್ರಾತ್ಮ ಅವರಿಂದ ಮುದ್ರಿತರಾದಿರಿ. ಹೀಗೆ ದೇವರಿಗೆ ಸೇರಿದವರು ವಿಮೋಚನೆ ಹೊಂದಿ ಸ್ವರ್ಗೀಯ ಸ್ವಾಸ್ಥ್ಯಕ್ಕೆ ಬಾಧ್ಯರಾಗಲು ಆ ಪವಿತ್ರಾತ್ಮರೇ ಆಧಾರ. ಈ ಕಾರಣ ದೇವರಿಗೆ ಮಹಿಮೆ ಸಲ್ಲಲಿ.

ಶುಭಸಂದೇಶ: ಮಾರ್ಕ 6:7-13


ಅನಂತರ ಯೇಸುಸ್ವಾಮಿ ಸುತ್ತಮುತ್ತಲಿನ ಊರುಗಳಿಗೆ ಹೋಗಿ ಜನರಿಗೆ ಪ್ರಬೋಧಿಸಿದರು. ಇದಲ್ಲದೆ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ ದೆವ್ವಬಿಡಿಸುವ ಅಧಿಕಾರವನ್ನಿತ್ತು, ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದರು. ಕಳುಹಿಸುವಾಗ, “ಪ್ರಯಾಣ ದಂಡವೊಂದನ್ನು ಹೊರತು ಇನ್ನೇನನ್ನೂ ತೆಗೆದುಕೊಂಡು ಹೋಗಬೇಡಿ. ಬುತ್ತಿ, ಜೋಳಿಗೆ, ಜೇಬಿನಲ್ಲಿ ಹಣ, ಯಾವುದೂ ಬೇಡ. ಪಾದರಕ್ಷೆಯನ್ನು ಮೆಟ್ಟಿಕೊಂಡರೆ ಸಾಕು. ಎರಡು ಅಂಗಿಗಳನ್ನೂ ತೊಟ್ಟುಕೊಳ್ಳಬೇಡಿ,” ಎಂದು ಅಪ್ಪಣೆ ಮಾಡಿದರು. ಇದಲ್ಲದೆ, “ನೀವು ಯಾವುದೇ ಒಂದು ಊರಿಗೆ ಹೋದಾಗ ಆ ಊರನ್ನು ಬಿಡುವವರೆಗೂ ಆತಿಥ್ಯ ನೀಡುವ ಯಾವುದಾದರೂ ಒಂದು ಮನೆಯಲ್ಲೇ ಉಳಿದುಕೊಳ್ಳಿ. ಯಾವುದೇ ಊರಿನ ಜನರು ನಿಮ್ಮನ್ನು ಸ್ವಾಗತಿಸದೆಯೂ ನಿಮ್ಮ ಬೋಧನೆಗೆ ಕಿವಿಗೊಡದೆಯೂ ಹೋದರೆ, ಆ ಊರನ್ನು ಬಿಟ್ಟು ಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅವರ ವಿರುದ್ಧ ಅದು ಸಾಕ್ಷಿಯಾಗಿರಲಿ,” ಎಂದರು. ಶಿಷ್ಯರು ಹೊರಟು ಹೋಗಿ, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ,” ಎಂದು ಜನರಿಗೆ ಸಾರಿ ಹೇಳಿದರು. ದೆವ್ವ ಹಿಡಿದಿದ್ದ ಅನೇಕರಿಂದ ದೆವ್ವಗಳನ್ನು ಹೊರಗಟ್ಟಿದರು. ತೈಲಲೇಪನಮಾಡಿ ಅನೇಕ ರೋಗಿಗಳನ್ನು ಗುಣಪಡಿಸಿದರು.

13.07.24 - "ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು"

ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 6:1-8 

ಅರಸ ಉಜ್ಜೀಯನು ಕಾಲವಾದ ವರ್ಷದಲ್ಲಿ ನನಗೆ ಸರ್ವೇಶ್ವರಸ್ವಾಮಿಯಿಂದ ದರ್ಶನವಾಯಿತು: ಉನ್ನತೋನ್ನತ ಸಿಂಹಾಸನದಲ್ಲಿ ಅವರು ಆಸೀನರಾಗಿದ್ದರು. ಅವರ ಮೇಲುವಸ್ತ್ರ ನೆರಿಗೆ ನೆರಿಗೆಯಾಗಿ ದೇವಾಲಯವನ್ನೆಲ್ಲ ಆವರಿಸಿತ್ತು. 2ಅವರ ಸುತ್ತಲು ಸೆರಾಫಿಯರೆಂಬ ತೇಜಸ್ವಿಗಳು ಇದ್ದರು. ಪ್ರತಿಯೊಬ್ಬರಿಗೂ ಆರಾರು ರೆಕ್ಕೆಗಳಿದ್ದವು. ಎರಡು ರೆಕ್ಕೆಗಳಿಂದ ಅವರ ಮುಖ ಮುಚ್ಚಿತ್ತು. ಇನ್ನೆರಡು ರೆಕ್ಕೆಗಳಿಂದ ಅವರ ಪಾದಗಳು ಮುಚ್ಚಿದ್ದವು. ಮತ್ತೆರಡು ರೆಕ್ಕೆಗಳನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದರು. ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ : “ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ ಜಗವೆಲ್ಲ ಆತನ ಪ್ರಭಾವಭರಿತ” ಎಂದು ಕೂಗಿ ಹೇಳಿದನು. ಆ ಶಬ್ದಕ್ಕೆ ದೇವಾಲಯದ ಅಸ್ತಿವಾರವೇ ಕಂಪಿಸಿತು. ಧೂಮವು ಆಲಯವನ್ನೆಲ್ಲ ತುಂಬಿತು. ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ!” ಎಂದು ಕೂಗಿಕೊಂಡೆನು. ಆಗ ಸೆರಾಫಿಯರಲ್ಲಿ - ತೇಜಸ್ವಿಯೊಬ್ಬನು ಬಲಿಪೀಠದಿಂದ, ಉರಿಯುವ ಕೆಂಡವೊಂದನ್ನು ಇಕ್ಕಳದಿಂದ ಹಿಡಿದುಕೊಂಡು ನನ್ನತ್ತ ಹಾರಿಬಂದನು. ಆ ಉರಿಕೆಂಡವನ್ನು ನನ್ನ ಬಾಯಿಗೆ ಮುಟ್ಟಿಸಿ: “ಇದು ನಿನ್ನ ತುಟಿಗಳನ್ನು ತಾಕಿದೆ. ಈಗ ದೋಷ ನೀಗಿತು. ನಿನ್ನ ಪಾಪ ಪರಿಹಾರ ಆಯಿತು,” ಎಂದನು. ಆಗ, “ಯಾರನ್ನು ಕಳುಹಿಸಲಿ? ನಮ್ಮ ಪರವಾಗಿ ಹೋಗುವವರು ಯಾರು?” ಎಂಬ ನುಡಿ ಕೇಳಿಸಿತು. ಅದಕ್ಕೆ ನಾನು, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿ” ಎಂದೆನು.

ಕೀರ್ತನೆ: 93:1, 1-2, 5
ಶ್ಲೋಕ:  ವಹಿಸಿಹನು ಪ್ರಭು ರಾಜ್ಯಾಧಿಕಾರವನು

ಶುಭಸಂದೇಶ: ಮತ್ತಾಯ 10:24-33



ಯೇಸುಸ್ವಾಮಿ ಶಿಷ್ಯರಿಗೆ ಕೊಟ್ಟ ಆದೇಶ ಇದು: "ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ದಾಸನು ದಣಿಗಿಂತ ದೊಡ್ಡವನಲ್ಲ. ಗುರುವಿನಂತೆ ಶಿಷ್ಯನೂ ದಣಿಯಂತೆ ದಾಸನೂ ಆದರೆ ಸಾಕು. ಮನೆಯ ಯಜಮಾನನನ್ನೇ ‘ಬೆಲ್ಜಬೂಲ್’ ಎಂದು ಕರೆದಿರುವಾಗ ಅವನ ಮನೆಯವರನ್ನು ಇನ್ನೆಷ್ಟು ಅವಹೇಳನ ಮಾಡಲಾರರು?” “ಜನರಿಗೆ ಭಯಪಡಬೇಡಿ. ಮುಚ್ಚುಮರೆ ಆಗಿರುವುದೆಲ್ಲ ಬಟ್ಟಬಯಲಾಗುವುದು. ಗುಟ್ಟಾಗಿ ಇರುವುದೆಲ್ಲ ರಟ್ಟಾಗುವುದು. ನಾನು ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಪ್ರಚುರಪಡಿಸಿರಿ, ಕಿವಿಮಾತಾಗಿ ಕೇಳಿದ್ದನ್ನು ಮನೆಮಾಳಿಗೆಯ ಮೇಲೆ ನಿಂತು ಸಾರಿರಿ. ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ. ಒಂದು ಕಾಸಿಗೆ ಎರಡು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೆ? ಆದರೂ ಅವುಗಳಲ್ಲಿ ಒಂದಾದರೂ ನಿಮ್ಮ ತಂದೆಯ ಅನುಮತಿಯಿಲ್ಲದೆ ನೆಲಕ್ಕೆ ಬೀಳುವುದಿಲ್ಲ. ಅಲ್ಲದೆ ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಆದುದರಿಂದ ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು. “ಜನರ ಮುಂದೆ, ತಾನು ನನ್ನವನೆಂದು ಬಹಿರಂಗವಾಗಿ ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನೆಂದು ಒಪ್ಪಿಕೊಳ್ಳುತ್ತೇನೆ. ಆದರೆ ಯಾವನಾದರೂ ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸಿದರೆ, ಅಂಥವನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನಲ್ಲವೆಂದು ನಿರಾಕರಿಸುತ್ತೇನೆ."

12.07.24 - "ಏಕೆಂದರೆ ನೀವು ಹೇಳಬೇಕಾದುದ್ದನ್ನು ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡಲಾಗುವುದು"

ಮೊದಲನೇ ವಾಚನ: ಪ್ರವಾದಿ ಹೋಶೇಯನ ಗ್ರಂಥ 14:2-10 

ಇಸ್ರಯೇಲ್, ನಿನ್ನ ಸರ್ವೇಶ್ವರನಾದ ದೇವರ ಬಳಿಗೆ ಹಿಂದಿರುಗು. ನಿನ್ನ ಪಾಪದ್ರೋಹಗಳೇ ನಿನ್ನ ಪತನಕ್ಕೆ ಕಾರಣ. ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು. ಅಸ್ಸೀರಿಯದಿಂದ ನಮಗೆ ರಕ್ಷಣೆ ದೊರಕದು. ನಾವು ಕಾಳಗದ ಕುದುರೆಗಳ ಮೇಲೆ ಇನ್ನೆಂದೂ ಸವಾರಿ ಮಾಡೆವು. ನಮ್ಮ ಕೈಗಳು ನಿರ್ಮಿಸಿರುವ ವಿಗ್ರಹಗಳನ್ನು ವೀಕ್ಷಿಸಿ, ‘ನೀವೇ ನಮ್ಮ ದೇವರು’ ಎಂದು ಜಪಿಸೆವು. ಓ ದೇವಾ, ದಿಕ್ಕಿಲ್ಲದವರಿಗೆ ಕರುಣೆತೋರಿಸುವವನು ನೀನೇ,” ಎಂದು ಹೇಳು. ಸರ್ವೇಶ್ವರ ಇಂತೆನ್ನುತ್ತಾರೆ: ಪರಿಹರಿಸುವೆನು ಜನರ ಭ್ರಷ್ಟತನವನು ಪ್ರೀತಿಸುವೆನು ಮನಪೂರ್ವಕವಾಗಿ ಅವರನು ತ್ಯಜಿಸಿಬಿಡುವೆನು ಅವರ ಮೇಲಿದ್ದ ಕೋಪವನು. ಇರುವೆನು ಇಸ್ರಯೇಲಿಗೆ ಇಬ್ಬನಿಯಂತೆ ಅರಳುವುದು ಆ ನಾಡು ತಾವರೆಯಂತೆ ಬೇರೂರುವುದು ಲೆಬನೋನಿನ ದೇವದಾರು ವೃಕ್ಷದಂತೆ. ಹರಡಿಕೊಳ್ಳುವುದದು ಮರದ ರೆಂಬೆಗಳಂತೆ ಕಂಗೊಳಿಸುವುದು ಚೆಲುವಾದ ಓಲಿವ ಮರದಂತೆ ಅದರ ಪರಿಮಳ ಮನೋಹರ ಲೆಬನೋನಿನ ಲತೆಗಳಂತೆ. ಮರಳಿ ಆಶ್ರಯಿಸುವರು ನನ್ನ ನೆರಳನ್ನು ಆ ಜನತೆ ಅಭಿವೃದ್ಧಿಯಾಗುವರು ಉದ್ಯಾನವನದಂತೆ ಫಲಪ್ರದವಾಗುವರು ಆ ಜನರು ದ್ರಾಕ್ಷಾಲತೆಯಂತೆ ಸುಪ್ರಸಿದ್ಧ ಅವರ ಕೀರ್ತಿ ಲೆಬನೋನಿನ ದ್ರಾಕ್ಷಾರಸದಂತೆ. ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ”. ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.” ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿ ಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.

ಕೀರ್ತನೆ: 51:3-4, 8-9, 12-13, 14, 17

ಶ್ಲೋಕ:  ನಿನ್ನ ಸತ್ಯಸಂಧತೆಯನು ಸಾರುವೆ ಮುಕ್ತಕಂಠದಿಂದ

ಶುಭಸಂದೇಶ: ಮತ್ತಾಯ 10:16-23

ಯೇಸುಸ್ವಾಮಿ ಶಿಷ್ಯರ ನಿಯೋಗವನ್ನು ಕಳುಹಿಸುವಾಗ ಅವರಿಗೆ ಕೊಟ್ಟ ಆದೇಶ ಇದು: “ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ. ಜನರ ಬಗ್ಗೆ ಜಾಗರೂಕರಾಗಿರಿ! ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಹಿಡಿದೊಪ್ಪಿಸುವರು. ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವರು. ನನ್ನ ನಿಮಿತ್ತ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರುಗಳ ಮುಂದೆ ಎಳೆದೊಯ್ಯುವರು. ಅವರ ಹಾಗೂ ಪರಕೀಯರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ. ನಿಮ್ಮನ್ನು ಹಿಡಿದೊಪ್ಪಿಸುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ. ಏಕೆಂದರೆ ನೀವು ಹೇಳಬೇಕಾದುದ್ದನ್ನು ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡಲಾಗುವುದು. ಆಗ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮ ಮುಖಾಂತರ ಮಾತನಾಡುವುದು. ಸಹೋದರನು ಸಹೋದರನನ್ನೇ ತಂದೆಯು ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು. ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು. ಒಂದು ಊರಿನಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ, ಮತ್ತೊಂದು ಊರಿನಲ್ಲಿ ಆಶ್ರಯ ಪಡೆಯಿರಿ. ನರಪುತ್ರನು ಬರುವಷ್ಟರಲ್ಲಿ ನೀವು ಇಸ್ರಯೇಲ್ ಜನರ ಊರುಗಳನ್ನೆಲ್ಲಾ ಸುತ್ತಿ ಮುಗಿಸಿರಲಾರಿರಿ; ಇದು ನಿಶ್ಚಯ.



11.07.24 - "ಬೋಧನೆಮಾಡಿರಿ. ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ"

ಮೊದಲನೇ ವಾಚನ: ಪ್ರವಾದಿ ಹೋಶೇಯನ ಗ್ರಂಥ 11:1, 3-4, 8-9 

ಸರ್ವೇಶ್ವರ ಇಂತೆನ್ನುತ್ತಾರೆ: “ಪ್ರೀತಿಸಿದೆನು ಇಸ್ರಯೇಲನ್ನು ಅದರ ಬಾಲ್ಯಾವಸ್ಥೆಯಿಂದ; ಕರೆದೆನು ನನ್ನ ಆ ಪುತ್ರನನು ಈಜಿಪ್ಟಿನಿಂದ. ಎಫ್ರಯಿಮಿಗೆ ಅಂಬೆಗಾಲಿಡಲು ಕಲಿಸಿದವನು ನಾನೇ ಅದನ್ನು ಕೈಗಳಲ್ಲಿ ಎತ್ತಿಕೊಂಡು ಆಡಿಸಿದವನು ನಾನೇ ಆ ಜನರನ್ನು ಸ್ವಸ್ಥಮಾಡಿದವನೂ ನಾನೇ; ಆದರೆ ಅರಿತುಕೊಳ್ಳದೆಹೋದರು ಈ ವಿಷಯವನೇ. ಬೆಳೆಸಿದೆನು ಅವರನ್ನು ಕರುಣೆಯ ಕಟ್ಟುಗಳಲಿ, ಪ್ರೀತಿಯ ಬಂಧನದಲಿ ಸುಧಾರಿಸಿದೆ ಅವರ ಹೆಗಲಿಗೆ ಬಿಗಿದಿದ್ದ ನೊಗವನ್ನು ಬಿಚ್ಚಿ ಊಟ ಬಡಿಸಿದೆ ಅವರಿಗೆ ನೆಲಸಮ ಬಗ್ಗಿ. “ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ? ತಡೆಹಿಡಿಯುವೆನು ನನ್ನ ಉಗ್ರಕೋಪವನು ನಾಶಪಡಿಸಲಾರೆ ಮರಳಿ ಎಫ್ರಯಿಮನು. ನರಮಾನವನಲ್ಲ, ದೇವರು ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿಯು! ನನ್ನದಲ್ಲ ನಾಶಮಾಡುವ ರೋಷವು.

ಕೀರ್ತನೆ: 80:2, 3, 15-16

ಶ್ಲೋಕ:  ದೇವರೇ, ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು

ಶುಭಸಂದೇಶ:  ಮತ್ತಾಯ 10:7-15


ಹನ್ನೆರಡು ಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸುಸ್ವಾಮಿ ಅವರಿಗೆ ಕೊಟ್ಟ ಆದೇಶ ಇದು: "ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ. ಅದಕ್ಕೆ ಬದಲು ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ; ಹೋಗುತ್ತಾ, ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆಮಾಡಿರಿ. ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ. ದೆವ್ವಗಳನ್ನು ಬಿಡಿಸಿರಿ, ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿ. ಜೇಬಿನಲ್ಲಿ ಚಿನ್ನ, ಬೆಳ್ಳಿ, ತಾಮ್ರವನ್ನಾಗಲಿ, ಪ್ರಯಾಣಕ್ಕೆಂದು ಜೋಳಿಗೆಯನ್ನಾಗಲಿ, ಎರಡು ಅಂಗಿಗಳನ್ನಾಗಲಿ, ಕಾಲಿಗೆ ಕೆರವನ್ನಾಗಲಿ, ಕೈಗೆ ದಂಡವನ್ನಾಗಲಿ ತೆಗೆದುಕೊಳ್ಳಬೇಡಿ. ಏಕೆಂದರೆ, ದುಡಿಮೆಗಾರನು ಜೀವನಾಧಾರಕ್ಕೆ ಬಾಧ್ಯನು. “ನೀವು ಒಂದು ಪಟ್ಟಣಕ್ಕಾಗಲಿ, ಹಳ್ಳಿಗಾಗಲಿ ಹೋದಾಗ, ಅಲ್ಲಿ ನಿಮ್ಮನ್ನು ಬರಮಾಡಿಕೊಳ್ಳಲು ಯೋಗ್ಯನು ಯಾರೆಂದು ಕಂಡುಹಿಡಿಯಿರಿ. ಅಲ್ಲಿಂದ ಮುಂದಕ್ಕೆ ಸಾಗುವವರೆಗೂ ಅವನಲ್ಲೇ ತಂಗಿರಿ. ನೀವು ಒಂದು ಮನೆಗೆ ಹೋದಾಗ, “ಈ ಮನೆಗೆ ಶುಭವಾಗಲಿ!” ಎಂದು ಹರಸಿರಿ. ಆ ಮನೆಯವರು ನಿಮ್ಮನ್ನು ಸ್ವಾಗತಿಸಿದರೆ, ನಿಮ್ಮ ಆಶೀರ್ವಾದ ಅವರ ಮೇಲೆ ನೆಲಸಲಿ. ನಿಮ್ಮನ್ನು ಸ್ವಾಗತಿಸದೆಹೋದರೆ, ನಿಮ್ಮ ಆಶೀರ್ವಾದ ನಿಮಗೇ ಹಿಂದಿರುಗಲಿ. ಒಂದು ಮನೆಯೇ ಆಗಲಿ, ಊರೇ ಆಗಲಿ, ನಿಮ್ಮನ್ನು ಸ್ವಾಗತಿಸದೆ ಅಥವಾ ನಿಮಗೆ ಕಿವಿಗೊಡದೆಹೋದರೆ, ಆ ಮನೆಯನ್ನು ಅಥವಾ ಊರನ್ನು ಬಿಟ್ಟು ಮುಂದಕ್ಕೆ ಹೋಗಿರಿ. ಹೋಗುವಾಗ ನಿಮ್ಮ ಪಾದಗಳಿಗೆ ಅಂಟಿರುವ ದೂಳನ್ನೂ ಝಾಡಿಸಿಬಿಡಿ. ತೀರ್ಪಿನ ದಿನ ಆ ಊರಿನ ಗತಿ ಸೊದೋಮ್ ಮತ್ತು ಗೊಮೋರ ಊರುಗಳ ಗತಿಗಿಂತ ಕಠಿಣವಾಗಿರುವುದೆಂದು ನಾನು ನಿಮಗೆ ಒತ್ತಿ ಹೇಳುತ್ತೇನೆ.

10.07.24 - "ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆ ಮಾಡಿರಿ."

ಮೊದಲನೇ ವಾಚನ: ಪ್ರವಾದಿ ಹೋಶೇಯನ ಗ್ರಂಥ 10:1-3, 7-8, 12

ಇಸ್ರಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆ, ಫಲಭರಿತ ದ್ರಾಕ್ಷಾಬಳ್ಳಿ, ಅದರ ಫಲ ಹೆಚ್ಚಿದಂತೆಲ್ಲ ಬಲಿಪೀಠಗಳು ಹೆಚ್ಚಿಕೊಂಡಿವೆ. ಆ ನಾಡು ಅಭಿವೃದ್ಧಿಯಾದಂತೆಲ್ಲ, ಹೆಚ್ಚು ಸುಂದರವಾದ ವಿಗ್ರಹಸ್ತಂಭಗಳು ನಿರ್ಮಿತವಾಗಿವೆ. ಅವರದು ವಂಚನೆಯ ಮನಸ್ಸು. ಈಗ ಅವರು ತಮ್ಮ ಪಾಪಕ್ಕೆ ತಕ್ಕ ದಂಡನೆಯನ್ನು ಅನುಭವಿಸಲೇಬೇಕು. ಸರ್ವೇಶ್ವರಸ್ವಾಮಿ ಅವರ ಯಜ್ಞವೇದಿಗಳನ್ನು ಕೆಡವುವರು. ಅವರ ಪೂಜಾಸ್ತಂಭಗಳನ್ನು ಒಡೆದುಹಾಕುವರು. “ನಮಗೆ ರಾಜನೇ ಇಲ್ಲ. ನಾವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಲ್ಲ. ನಮಗೆ ರಾಜನಿದ್ದರೂ ಅವನು ನಮಗೆ ಏನು ತಾನೇ ಮಾಡಿಯಾನು?” ಎಂದು ಆ ಜನರು ಆಡಿಕೊಳ್ಳುತ್ತಾರೆ. ಸಮಾರ್ಯದ ರಾಜನು ಪ್ರವಾಹದಲ್ಲಿ ಕೊಚ್ಚಿಕೊಂಡುಹೋಗುವ ಕಡ್ಡಿಯಂತೆ ಕಣ್ಮರೆ ಆಗುವನು. ಇಸ್ರಯೇಲಿನ ಪಾಪಕ್ಕೆ ಆಸ್ಪದ ಆಗಿದ್ದ ಆವೆನಿನ ಪೂಜಾಸ್ಥಾನಗಳು ನಾಶವಾಗುವುವು. ಪಾಳುಬಿದ್ದ ಬಲಿಪೀಠಗಳ ಮೇಲೆ ಮುಳ್ಳುಕಳ್ಳಿಗಳು ಹುಟ್ಟಿಕೊಳ್ಳುವುವು. ಅಲ್ಲಿನ ಜನರು: ‘ಪರ್ವತವೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ ನಮ್ಮನ್ನು ನುಂಗಿಬಿಡಿ’ ಎಂದು ಕೂಗಿಕೊಳ್ಳುವರು.” ನಾನು ಇಂತೆಂದೆ: “ಪಾಳುಬಿದ್ದ ನೆಲವನ್ನು ಉತ್ತು ಹದಮಾಡಿರಿ; ನೀತಿಯ ಬೀಜವನ್ನು ಬಿತ್ತಿರಿ; ಪ್ರೀತಿಯ ಫಲವನ್ನು ಕೊಯ್ಯಿರಿ. ಸಮಯವು ಸನ್ನಿಹಿತವಾಗಿದೆ. ಸರ್ವೇಶ್ವರ ಆಗಮಿಸಿ ನಿಮ್ಮ ಮೇಲೆ ನೀತಿಯನ್ನು ಮಳೆಗರೆಯುವಂತೆ ಅವರಿಗೆ ಶರಣು ಹೋಗಬೇಕು.
ಕೀರ್ತನೆ: 105:2-3, 4-5, 6-7
ಶ್ಲೋಕ:  ಅಪೇಕ್ಷಿಸಿ ನಿತ್ಯವೂ ಪ್ರಭುವಿನ ದರ್ಶನವನು

ಶುಭಸಂದೇಶ: ಮತ್ತಾಯ 10:1-7


ಯೇಸುಸ್ವಾಮಿ ತಮ್ಮ ಹನ್ನೆರಡುಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು. ಆ ಹನ್ನೆರಡುಮಂದಿ ಪ್ರೇಷಿತರ ಹೆಸರುಗಳು ಇವು; ಮೊದಲನೆಯವನು ಪೇತ್ರ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ; ಫಿಲಿಪ್ಪ ಮತ್ತು ಬಾರ್ತೊಲೊಮಾಯ; ತೋಮ ಮತ್ತು ಸುಂಕ ವಸೂಲಿಗಾರ ಮತ್ತಾಯ; ಅಲ್ಫಾಯನ ಮಗ ಯಕೋಬ ಮತ್ತು ತದ್ದಾಯ; ದೇಶಾಭಿಮಾನಿ ಎಂದು ಕರೆಯಲಾದ ಸಿಮೋನ ಮತ್ತು ಗುರುದ್ರೋಹಿ ಆಗಲಿದ್ದ ಯೂದ ಇಸ್ಕರಿಯೋತ. ಆ ಹನ್ನೆರಡುಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸುಸ್ವಾಮಿ ಅವರಿಗೆ ಕೊಟ್ಟ ಆದೇಶ ಇದು: “ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ. ಅದಕ್ಕೆ ಬದಲು ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ; ಹೋಗುತ್ತಾ, ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆ ಮಾಡಿರಿ."






09.07.24 - “ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ"

ಮೊದಲನೇ ವಾಚನ: ಪ್ರವಾದಿ ಹೋಶೇಯನ ಗ್ರಂಥ 8:4-7, 11-13

“ಅವರು ನನ್ನ ಅನುಮತಿ ಇಲ್ಲದೆ ಅರಸರನ್ನು ನೇಮಿಸಿಕೊಂಡಿದ್ದಾರೆ. ನನಗೆ ತಿಳಿಯದಂತೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ಬೆಳ್ಳಿಬಂಗಾರದ ವಿಗ್ರಹಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಮಾಡಿರುವುದೆಲ್ಲ ಅವರ ನಾಶಕ್ಕಾಗಿಯೇ. ಸಮಾರಿಯವೇ, ನೀನು ನಿರ್ಮಿಸಿಕೊಂಡಿರುವ ಬಸವನನ್ನು ಧಿಕ್ಕರಿಸಿದ್ದೇನೆ. ನನ್ನ ಕೋಪಾಗ್ನಿ ನಿನ್ನ ಮೇಲೆ ಉರಿದುಬರುತ್ತಿದೆ. ಈ ಜನರು ನಿರ್ಮಲರಾಗುವುದಕ್ಕೆ ಇನ್ನೆಷ್ಟುಕಾಲ ಹಿಡಿಯುವುದೋ? ಆ ಬಸವ ಇಸ್ರಯೇಲಿನ ಕೈಕೆಲಸವೇ. ಶಿಲ್ಪಿ ಕೊಟ್ಟ ರೂಪವದು; ಅದು ದೇವರಲ್ಲ. ಸಮಾರ್ಯದ ಬಸವನು ನುಚ್ಚುನೂರಾಗುವನು. ಇವರು ಗಾಳಿಯನ್ನು ಬಿತ್ತುತ್ತಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅವರ ಪೈರು ತೆನೆಗೆ ಬಾರದು. ಕಾಳು ಮೊಳೆತರೂ ಕೂಳು ದೊರಕದು. ಒಂದು ವೇಳೆ ದೊರಕಿದರೂ ಅನ್ಯಜನರು ಅದನ್ನು ಕಬಳಿಸಿಬಿಡುವರು. “ಎಫ್ರಯಿಮ್ ಪಾಪಪರಿಹಾರಕ್ಕಾಗಿ ಬಲಿಪೀಠಗಳನ್ನು ಕಟ್ಟಿದೆ. ಆ ಬಲಿಪೀಠಗಳೇ ಅದರ ಪಾಪಕ್ಕೆ ಕಾರಣವಾಗಿ ಪರಿಣಮಿಸಿವೆ. ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪದಲ್ಲಿ ಬರೆದುಕೊಟ್ಟರೂ ಅವುಗಳು ತನಗೆ ಪರಕೀಯವೆಂದು ಭಾವಿಸುತ್ತದೆ. ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು."

ಕೀರ್ತನೆ: 115:3-4, 5-6, 7-8, 9-10
ಶ್ಲೋಕ:  ಪ್ರಭುವಿನಲ್ಲಿದೆ ಭರವಸೆ ಇಸ್ರಯೇಲ್ ಜನರಿಗೆ

ಶುಭಸಂದೇಶ: ಮತ್ತಾಯ 9:32-38


ಕುರುಡರು ಹೊರಟು ಹೋಗುತ್ತಿದ್ದ ಹಾಗೆ, ದೆವ್ವ ಹಿಡಿದಿದ್ದ ಒಬ್ಬ ಮೂಕನನ್ನು ಕೆಲವರು ಯೇಸುಸ್ವಾಮಿಯ ಬಳಿಗೆ ಕರೆತಂದರು. ದೆವ್ವ ಬಿಡಿಸಿದ ಮೇಲೆ ಆ ಮೂಕನಿಗೆ ಮಾತು ಬಂದಿತು. ಜನರೆಲ್ಲರೂ ಆಶ್ಚರ್ಯಚಕಿತರಾದರು. “ಇಂತಹ ಕಾರ್ಯವನ್ನು ನಾವು ಇಸ್ರಯೇಲಿನಲ್ಲಿ ಕಂಡದ್ದೇ ಇಲ್ಲ!” ಎಂದುಕೊಂಡರು. ಆದರೆ ಫರಿಸಾಯರು, “ಇವನು ದೆವ್ವಗಳೊಡೆಯನ ಶಕ್ತಿಯಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ,” ಎಂದರು. ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿ ಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾತರದ ರೋಗರುಜಿನಗಳನ್ನು ಗುಣಪಡಿಸಿದರು. ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು. ಏಕೆಂದರೆ, ಕುರುಬನಿಲ್ಲದ ಕುರಿಗಳಂತೆ ಅವರು ತೊಳಲಿದ್ದರು ಹಾಗೂ ಬಳಲಿದ್ದರು. ಆದುದರಿಂದ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ,” ಎಂದರು.

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...