27.05.25

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 16:22-34

ಜನರ ಗುಂಪು ಅವರೊಡನೆ ಸೇರಿ ದೊಂಬಿಮಾಡಿತು. ನ್ಯಾಯಾಧಿಪತಿಗಳು ಪೌಲ ಮತ್ತು ಸೀಲರ ವಸ್ತ್ರಗಳನ್ನು ಕಿತ್ತುಹಾಕಿಸಿ ಛಡಿ ಏಟುಗಳನ್ನು ಕೊಡುವಂತೆ ಆಜ್ಞೆಮಾಡಿದರು. ಅವರನ್ನು ಚೆನ್ನಾಗಿ ಥಳಿಸಿದ ಮೇಲೆ ಸೆರೆಮನೆಯಲ್ಲಿ ಹಾಕಿ ಎಚ್ಚರಿಕೆಯಿಂದ ನೋಡಿಕೊಳ್ಳಬೇಕೆಂದು ಸೆರೆಮನೆಯ ಅಧಿಕಾರಿಗೆ ಅಪ್ಪಣೆ ವಿಧಿಸಲಾಯಿತು. ಅಂತೆಯೇ, ಆ ಅಧಿಕಾರಿ ಅವರನ್ನು ಸೆರೆಮನೆಯ ಒಳಕೋಣೆಗೆ ತಳ್ಳಿ ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಿಗಿಸಿದನು. ಸುಮಾರು ನಡುರಾತ್ರಿಯ ಸಮಯ. ಪೌಲ ಮತ್ತು ಸೀಲ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು. ಇದ್ದಕ್ಕಿದ್ದಂತೆ ಭೀಕರ ಭೂಕಂಪ ಉಂಟಾಯಿತು. ಸೆರೆಮನೆಯ ಅಸ್ತಿವಾರವೇ ಕದಲಿತು. ಆ ಕ್ಷಣವೇ ಕದಗಳೆಲ್ಲಾ ತೆರೆದುವು. ಕೈದಿಗಳೆಲ್ಲರ ಬಂಧನಗಳು ಕಳಚಿಬಿದ್ದವು. ಎಚ್ಚೆತ್ತ ಅಧಿಕಾರಿ ಸೆರೆಮನೆಯ ಬಾಗಿಲುಗಳೆಲ್ಲಾ ತೆರೆದಿರುವುದನ್ನು ಕಂಡನು. ಕೈದಿಗಳೆಲ್ಲರು ತಪ್ಪಿಸಿಕೊಂಡಿರುವರೆಂದು ಭಾವಿಸಿ ತನ್ನ ಖಡ್ಗವನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳುವುದರಲ್ಲಿದ್ದನು. ಆಗ ಪೌಲನು ಗಟ್ಟಿಯಾಗಿ ಕೂಗುತ್ತಾ, “ನೀನೇನೂ ಹಾನಿಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ,” ಎಂದನು. ಸೆರೆಮನೆಯ ಅಧಿಕಾರಿ ದೀಪವನ್ನು ತರಿಸಿ, ಒಳಗೆ ಧಾವಿಸಿ ಬಂದು, ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಪಾದಕ್ಕೆ ಬಿದ್ದನು. ಅನಂತರ ಅವರನ್ನು ಹೊರಗೆ ಕರೆತಂದು, “ಸ್ವಾಮಿಗಳೇ, ಜೀವೋದ್ಧಾರ ಪಡೆಯಲು ನಾನು ಮಾಡಬೇಕಾದುದು ಏನು?” ಎಂದು ವಿಚಾರಿಸಿದನು. “ಪ್ರಭು ಯೇಸುವಿನಲ್ಲಿ ವಿಶ್ವಾಸವಿಡು, ನೀನೂ ನಿನ್ನ ಮನೆಯವರೆಲ್ಲರೂ ಜೀವೋದ್ಧಾರವನ್ನು ಹೊಂದುವಿರಿ,” ಎಂದು ಅವರು ಉತ್ತರಕೊಟ್ಟರು. ಅನಂತರ ಪ್ರಭುವಿನ ಸಂದೇಶವನ್ನು ಅವನಿಗೂ ಅವನ ಮನೆಯಲ್ಲಿದ್ದ ಎಲ್ಲರಿಗೂ ಬೋಧಿಸಿದರು. ರಾತ್ರಿಯ ವೇಳೆಯಲ್ಲೇ ಸೆರೆಮನೆಯ ಅಧಿಕಾರಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು. ಅನಂತರ ಅವನೂ ಅವನ ಕುಟುಂಬದವರೂ ದೀಕ್ಷಾಸ್ನಾನವನ್ನು ಪಡೆದರು. ಬಳಿಕ ಪೌಲ ಮತ್ತು ಸೀಲರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಬಡಿಸಿದನು. ದೇವರಲ್ಲಿ ವಿಶ್ವಾಸವಿಡುವ ಸದವಕಾಶ ದೊರಕಿದ್ದಕ್ಕಾಗಿ ಅವನೂ ಅವನ ಮನೆಯವರೆಲ್ಲರೂ ಉಲ್ಲಾಸಗೊಂಡರು.

ಕೀರ್ತನೆ: 138:1-2, 2-3, 7-8
ಶ್ಲೋಕ: ಇಕ್ಕಟಿನಲ್ಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭೂ ಪ್ರಾಣವನು.

ಹೃದಯಪೂರ್ವಕ ವಂದನೆ ಪ್ರಭು ನಿನಗೆ I
ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ II
ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I
ನಿನ್ನ ಪ್ರೀತಿಸತ್ಯತೆಗಳನಾಮ ನುಡಿಗಳ ಮಹತ್ವದ ಪ್ರಯುಕ್ತ II

ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I
ನಿನ್ನ ಪ್ರೀತಿಸತ್ಯತೆಗಳನಾಮ ನುಡಿಗಳ ಮಹತ್ವದ ಪ್ರಯುಕ್ತ II
ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು I
ಅಧಿಕಮಾಡಿದೆ ನೀನು ನನ್ನಾತ್ಮ ಶಕ್ತಿಯನು II

ಇಕ್ಕಟ್ಟಿನಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭುಪ್ರಾಣವನು I
ಶತ್ರುಕೋಪಕೆ ವಿರುದ್ಧವಾಗಿ ತೋರುವೆ ನೀ ಮುಷ್ಟಿಯನು II
ಸಿದ್ಧಿಗೆ ತರುವೆ ನೀ ಪ್ರಭುನನ್ನ ಕಾರ್ಯವನು I
ಶಾಶ್ವತವಾಗಿಸು ನಿನ್ನ ಅಚಲ ಪ್ರಿತಿಯನು I
ಮರೆತುಬಿಡಬೇಡ ನಿನ್ನಯ ಕೈ ಕೃತಿಯನು II

ಯೊವಾನ್ನ 16:5-11


“ನಾನು ನಿಮ್ಮ ಸಂಗಡ ಇದ್ದುದರಿಂದ ಇದನ್ನೆಲ್ಲಾ ಮೊದಲೇ ನಿಮಗೆ ತಿಳಿಸಲಿಲ್ಲ. ಈಗಲಾದರೋ ನನ್ನನ್ನು ಕಳುಹಿಸಿದಾತನಲ್ಲಿಗೆ ನಾನು ತೆರಳುತ್ತೇನೆ. ನಾನು ಹೋಗುವುದು ಎಲ್ಲಿಗೆ ಎಂದು ನೀವು ಯಾರೂ ಕೇಳುತ್ತಿಲ್ಲವಾದರೂ ಇದನ್ನೆಲ್ಲಾ ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ. ವಾಸ್ತವವಾಗಿ ಹೇಳುವುದಾದರೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ, ಪೋಷಕ ನಿಮ್ಮಲ್ಲಿಗೆ ಬರುವುದಿಲ್ಲ. ನಾನು ಹೋದರೆ ಮಾತ್ರ ಅವರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡಬಲ್ಲೆ. ಆ ಪೋಷಕ ಬಂದು ಪಾಪ, ನ್ಯಾಯನೀತಿ, ಮತ್ತು ಅಂತಿಮತೀರ್ಪು ಇವುಗಳನ್ನು ಕುರಿತು ಲೋಕದ ಜನತೆ ತಾಳಿದ್ದ ತಪ್ಪುಭಾವನೆಗಳನ್ನು ಮನವರಿಕೆ ಮಾಡಿಕೊಡುವರು. ಪಾಪದ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ಅವರು ನನ್ನಲ್ಲಿ ವಿಶ್ವಾಸ ಇಡಲಿಲ್ಲ. ನ್ಯಾಯನೀತಿಯ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ನಾನು ಪಿತನ ಬಳಿಗೆಹೋಗುತ್ತೇನೆ ಮತ್ತು ನೀವು ನನ್ನನ್ನು ಕಾಣಲಾರಿರಿ. ಅಂತಿಮ ತೀರ್ಪಿನ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ಇಹದ ಲೋಕಾಧಿಪತಿಗೆ ಈಗಾಗಲೇ ನ್ಯಾಯತೀರ್ಪನ್ನು ಕೊಡಲಾಗಿದೆ.

26.05.25 - "ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 16:11-15

ನಾವು ತ್ರೋವದಲ್ಲಿ ಹಡಗು ಹತ್ತಿ ಸಮೊಥ್ರಕ್ಕೆ ನೇರವಾಗಿ ಪ್ರಯಾಣಮಾಡಿದೆವು. ಮಾರನೆಯ ದಿನ ನೆಯಫೋಲನ್ನು ತಲುಪಿ, ಅಲ್ಲಿಂದ ಮಕೆದೋನಿಯದ ಪ್ರಮುಖ ಪಟ್ಟಣವಾದ ಫಿಲಿಪ್ಪಿಗೆ ಬಂದೆವು. ಇದು ರೋಮಿನ ವಸಾಹತು; ಇಲ್ಲಿ ಕೆಲವು ದಿನಗಳನ್ನು ಕಳೆದೆವು. ಪಟ್ಟಣದ ಹೊರಗಿರುವ ನದಿತೀರದ ಬಳಿ ಯೆಹೂದ್ಯರ ಪ್ರಾರ್ಥನಾ ಸ್ಥಳವಿರಬಹುದೆಂದು ಭಾವಿಸಿ ಸಬ್ಬತ್ದಿನ ಅಲ್ಲಿಗೆ ಹೋದೆವು. ನಾವು ಕುಳಿತುಕೊಂಡು ಅಲ್ಲಿ ಸೇರಿದ್ದ ಮಹಿಳೆಯರೊಡನೆ ಸಂಭಾಷಿಸಿದೆವು. ನಮ್ಮ ಬೋಧನೆಯನ್ನು ಕೇಳಿದ ಆ ಮಹಿಳೆಯರಲ್ಲಿ ಲಿಡಿಯ ಎಂಬವಳು ಒಬ್ಬಳು. ಈಕೆ ಥುವತೈರ ಎಂಬ ಊರಿನವಳು; ಪಟ್ಟೆಪೀತಾಂಬರಗಳ ವ್ಯಾಪಾರಿ ಹಾಗೂ ದೇವಭಕ್ತೆ. ಪೌಲನ ಬೋಧನೆಗೆ ಕಿವಿಗೊಟ್ಟು ಗ್ರಹಿಸುವಂತೆ ಪ್ರಭು ಆಕೆಯ ಹೃದಯವನ್ನು ತೆರೆದರು. ಅಂತೆಯೇ ತನ್ನ ಮನೆಯವರ ಸಮೇತ ದೀಕ್ಷಾಸ್ನಾನವನ್ನು ಪಡೆದಳು. ಅನಂತರ, “ನಾನು ಪ್ರಭುವಿನ ನಿಜವಾದ ವಿಶ್ವಾಸಿಯೆಂದು ನೀವು ಒಪ್ಪಿಕೊಳ್ಳುವುದಾದರೆ ನನ್ನ ಮನೆಗೆ ಬಂದು ತಂಗಿರಿ,” ಎಂದು ನಮ್ಮನ್ನು ಒತ್ತಾಯಪೂರ್ವಕವಾಗಿ ಆಹ್ವಾನಿಸಿದಳು.

ಕೀರ್ತನೆ: 149:1-2, 3-4, 5-6, 9
ಶ್ಲೋಕ: ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು!

ಹಾಡಿರಿ ಪ್ರಭುವಿಗೆ ನೂತನ ಕೀರ್ತನೆಯನು I
ಭಕ್ತರ ಸಭೆಯಲಿ ಸ್ತುತಿಮಾಡಿರಿ ಆತನನು II
ಆನಂದಿಸಲಿ ತಮ್ಮ ಸೃಷ್ಟಿಕರ್ತನಲಿ ಇಸ್ರಯೇಲರು I
ತಮ್ಮಾ ರಾಜನಿಗೆ ಜಯಕಾರ ಮಾಡಲಿ ಸಿಯೋನಿನವರು II

ಆತನ ನಾಮವನು ಕೀರ್ತಿಸಲಿ ಕುಣಿತದಿಂದ I
ಆತನನು ಭಜಿಸಲಿ ತಮಟೆಕಿನ್ನರಿಗಳಿಂದ II
ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು I
ಜಯಶೀಲರನ್ನಾಗಿಸುತ್ತಾನೆ ದೀನದಲಿತರನು

ಹಿಗ್ಗಲಿ ಭಕ್ತಾದಿಗಳು ದೊರೆತ ವಿಜಯದಲಿ I
ಜಯಕಾರ ಮಾಡಲಿ ತಮ್ಮ ತಮ್ಮ ಶಿಬಿರಗಳಲಿ II
ಇರಲಿ ಪ್ರಭುವಿನ ಸ್ತೋತ್ರ ಅವರ ಬಾಯಲಿ I
ಇದು ತರಲಿ ಭಕ್ತರೆಲ್ಲರಿಗೆ ಗೌರವವನು I

ಯೊವಾನ್ನ 15:26-16:4



ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ಪಿತನಿಂದ ಹೊರಡುವ ಸತ್ಯಸ್ವರೂಪಿಯಾದ ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು. ಅವರು ಬಂದು ನನ್ನ ಪರವಾಗಿ ಸಾಕ್ಷಿನೀಡುವರು. ಅಂಥಕಾಲ ಬಂದಾಗ ಇದನ್ನೆಲ್ಲಾ ಕುರಿತು ನಾನು ನಿಮ್ಮನ್ನು ಮೊದಲೇ ಎಚ್ಚರಿಸಿದ್ದೇನೆಂದು ನೀವು ನೆನಸಿಕೊಳ್ಳುವಂತೆ ಇದನ್ನು ಹೇಳುತ್ತಿದ್ದೇನೆ."

25.05.25 - "ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:1-2, 22-29

ಜುದೇಯದಿಂದ ಕೆಲವು ಜನರು ಅಂತಿಯೋಕ್ಯಕ್ಕೆ ಬಂದು ಅಲ್ಲಿನ ಭಕ್ತವಿಶ್ವಾಸಿಗಳಿಗೆ, "ಮೋಶೆಯ ನಿಯಮದಂತೆ ನೀವು ಸುನ್ನತಿ ಮಾಡಿಸಿಕೊಂಡ ಹೊರತು ಜೀವೋದ್ಧಾರ ಪಡೆಯಲಾರಿರಿ," ಎಂದು ಬೋಧಿಸತೊಡಗಿದರು. ಈ ವಿಷಯವಾಗಿ ಅವರಿಗೂ ಪೌಲ ಮತ್ತು ಬಾರ್ನಬರಿಗೂ ಭಿನ್ನಾಭಿಪ್ರಾಯ ಉಂಟಾಗಿ ತೀವ್ರ ವಿವಾದವೆದ್ದಿತು. ಆದುದರಿಂದ ಈ ಸಮಸ್ಯೆಯ ಬಗ್ಗೆ ಪೌಲ ಮತ್ತು ಬಾರ್ನಬರು ಅಂತಿಯೋಕ್ಯದ ಇನ್ನೂ ಕೆಲವರ ಸಮೇತ ಜೆರುಸಲೇಮಿಗೆ ಹೋಗಿ ಪ್ರೇಷಿತರನ್ನೂ ಪ್ರಮುಖರನ್ನೂ ಕಾಣಬೇಕೆಂದು ತೀರ್ಮಾನಿಸಲಾಯಿತು. ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿ ಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ನಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಬೇಕೆಂದು ನಿರ್ಧರಿಸಿದರು. ಅಂತೆಯೇ, ಸಹೋದರರಲ್ಲಿ ಬಹು ಗೌರವಾನ್ವಿತರಾದ ಬಾರ್ನಬ ಎಂದು ಕರೆಯಲಾದ ಯೂದ ಮತ್ತು ಸೀಲ ಎಂಬ ಇಬ್ಬರನ್ನು ಆರಿಸಿದರು. ಈ ಕೆಳಗಿನ ಪತ್ರವನ್ನು ಬರೆದು ಅವರ ಕೈಯಲ್ಲಿ  ಕಳುಹಿಸಿದರು. "ಅಂತಿಯೋಕ್ಯ, ಸಿರಿಯ ಮತ್ತು ಸಿಲಿಸಿಯಗಳಲ್ಲಿ ವಾಸಿಸುವ ಯೆಹೂದ್ಯೇತರ ಸಹೋದರರಿಗೆ - ಪ್ರೇಷಿತರೂ ಸಭಾಪ್ರಮುಖರೂ ನಿಮ್ಮ ಸಹೋದರರೂ ಆದ ನಮ್ಮ ಶುಭಾಶಯಗಳು! ನಮ್ಮ ಕಡೆಯ ಕೆಲವು ಜನರು ನಮ್ಮಿಂದ ಯಾವ ಆದೇಶವನ್ನೂ ಪಡೆಯದೆ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮ ಮನಸ್ಸನ್ನು ಕಲಕಿದರೆಂಬ ಸಮುಚಾರ ನಮ್ಮ ಗಮನಕ್ಕೆ ಬಂದಿದೆ. ಆದುದರಿಂದ ನಾವೆಲ್ಲರೂ ಸಭೆ ಸೇರಿ ಪ್ರತಿನಿಧಿಗಳನ್ನು ಆರಿಸಿ ನಿಮ್ಮಲ್ಲಿಗೆ ಕಳುಹಿಸಲು ನಿರ್ಧರಿಸಿದೆವು ನಮ್ಮ ಪ್ರಭುವಾದ ಯೇಸುಕ್ರಿಸ್ತರಿಗಾಗಿ ತಮ್ಮಪ್ರಾಣವನ್ನೇ ಮುಡಿಪಾಗಿಟ್ಟಿರುವ ನಮ್ಮೊಲವಿನ ಬಾರ್ನಬ ಮತ್ತು ಪೌಲರೊಡನೆ ಈ ಪ್ರತಿನಿಧಿಗಳು ಬರುತ್ತಿದ್ದಾರೆ. ಇವರೇ ನಾವು ಕಳುಹಿಸುತ್ತಿರುವ ಯೂದ ಮತ್ತು ಸೀಲ. ಇವರು ನಾವು ಬರೆದಿರುವುದನ್ನು ನಿಮಗೆ ಖುದ್ದಾಗಿ ತಿಳಿಸುವರು. ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು ಅದನ್ನು ಸೇವಿಸಬಾರದು; ರಕ್ತವನ್ನಾಗಲಿ, ಕುತ್ತಿಗೆ ಹಿಸುಕಿದ ಪ್ರಾಣಿಗಳನ್ನಾಗಲಿ ತಿನ್ನಬಾರದು; ಅನೈತಿಕತೆಯಿಂದ ದೂರವಿರಬೇಕು. ಈ ಅಗತ್ಯ ನಿಯಮಗಳ ಹೊರತು ಬೇರೆ ಯಾವ ಹೊರೆಯನ್ನೂ ನಿಮ್ಮ ಮೇಲೆ ಹೇರುವುದು ವಿಹಿತವಲ್ಲವೆಂಬುದು ಪವಿತ್ರಾತ್ಮ ಅವರ ಹಾಗೂ ನಮ್ಮ ತೀರ್ಮಾನ. ಈ ನಿಯಮಗಳನ್ನು  ಅನುಸರಿಸಿದರೆ, ನಿಮಗೆ ಒಳಿತಾಗುವುದು, ನಿಮಗೆ ಶುಭವಾಗಲಿ!"

ಕೀರ್ತನೆ: 67:2-3, 5, 6, 8
ಶ್ಲೋಕ: ನಿನ್ನ ಕೀರ್ತಿಸಲಿ ದೇವಾ, ಜನರು ಸಂಕೀರ್ತಿಸಲಿ ಅವರೆಲ್ಲರೂ

ಎರಡನೇ ವಾಚನ: ಪ್ರಕಟನಾ ಗ್ರಂಥ 21:10-14, 22-23

ಆಗ ಯೊವಾನ್ನನಾದ ನಾನು ಪವಿತ್ರಾತ್ಮವಶನಾದೆ. ಆ ದೇವದೂತನು ನನ್ನನ್ನು ಎತ್ತರವಾದ ಬೆಟ್ಟದ ಮೇಲೆ ಕೊಂಡೂಯ್ದನು. ಅಲ್ಲಿ ಅವನಿಗೆ ಪವಿತ್ರ ನಗರವಾದ ಜೆರುಸಲೇಮನ್ನು ತೋರಿಸಿದನು. ಅದು ಸ್ವರ್ಗದಲ್ಲಿರುವ ದೇವರ ಬಳಿಯಿಂದ ಕೆಳಗಿಳಿದು ಬರುತ್ತಿತ್ತು; ದೇವರ ತೇಜಸ್ಸಿನಿಂದ ಕೂಡಿತ್ತು; ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು. ಸ್ವಚ್ಛವಾದ ಸ್ಪಟಿಕದಂತೆ ಶುಬ್ರವಾಗಿತ್ತು. ಆ ನಗರದ ಸುತ್ತಲೂ ಎತ್ತರವಾದ  ಕೋಟೆಯಿತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳಿಗೆ ಹನ್ನೆರಡು ಮಂದಿ ದೇವದೂತರುಗಳು ಕಾವಲಿದ್ದರು. ಆ ಬಾಗಿಲುಗಳ ಮೇಲೆ ಇಸ್ರಯೇಲಿನ ಹನ್ನೆರಡು ಕುಲಗಳ ಹೆಸರುಗಳನ್ನು ಬರೆದಿತ್ತು. ಪೂರ್ವದಿಕ್ಕಿನಲ್ಲಿ ಮೂರು ಬಾಗಿಲುಗಳು,  ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು, ಮತ್ತು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು. ಆ ನಗರದ ಕೋಟೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಹನ್ನೆರಡು ಹೆಸರುಗಳಿದ್ದವು ಯಜ್ಞದ ಕುರಿಮರಿಯ ಹನ್ನೆರಡು ಪ್ರೇಷಿತರ ಹೆಸರುಗಳು ಅವು ಆ ನಗರದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ; ಏಕೆಂದರೆ, ಸರ್ವಶಕ್ತ ದೇವರಾದ ಪ್ರಭುವೂ ಯಜ್ಞದ ಕುರಿಮರಿಯಾದಾತನೂ  ಅದರ ದೇವಾಲಯವಾಗಿದ್ದಾರೆ. ನಗರಕ್ಕೆ ಬೆಳಕನ್ನು ಕೊಡಲು ಸೂರ್ಯ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು. ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.

ಶುಭಸಂದೇಶ: ಯೊವಾನ್ನ 14:23-29


ಆಗ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು. ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು. ನನ್ನನ್ನು ಪ್ರೀತಿಸದೆ ಇರುವವನು ನನ್ನ ಮಾತನ್ನು ಕೈಗೊಂಡು ನಡೆಯುವುದಿಲ್ಲ. ನೀವು ಕೇಳುತ್ತಿರುವ ಮಾತು ನನ್ನದಲ್ಲ. ನನ್ನನ್ನು ಕಳುಹಿಸಿದ ಪಿತನದೇ. ನಾನು ನಿಮ್ಮೊಡನೆ ಇರುವಾಗಲೇ ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಆದರೆ ಪಿತನು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪೊಷಕರಾದ ಪವಿತ್ರಾತ್ಮ ನಿಮಗೆ ಎಲ್ಲವನ್ನೂ ಬೋಧಿಸಿ ನಾನು ಹೇಳಿರುವುದನ್ನೆಲ್ಲಾ ನಿಮ್ಮ ನೆನಪಿಗೆ ತರುವರು. ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ; ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ. ಭಯಪಡಬೇಡಿ. ನಾನು ಹೊರಟು ಹೋಗುತ್ತೇನೆಂದೂ ಮತ್ತೆ ನಿಮ್ಮ ಬಳಿಗೆ ಬರುತ್ತೇನೆಂದೂ ನಾನು ಹೇಳಿದ್ದನ್ನು ನೀವು ಕೇಳಿದ್ದೀರಿ ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ಪಿತನ ಬಳಿಗೆ ಹೋಗುತ್ತಿರುವುದನ್ನು ಕುರಿತು ಹಿಗ್ಗುತ್ತಿದ್ದಿರಿ. ಏಕೆಂದರೆ ಪಿತ ನನಗಿಂತಲೂ ಶ್ರೇಷ್ಠರು. ಇದೆಲ್ಲಾ ಈಡೇರುವಾಗ ನೀವು ವಿಶ್ವಾಸಿಸುವಂತೆ ಅದು ಈಡೇರುವುದಕ್ಕೆ ಮುಂಚೆಯೇ ನಿಮಗೆ ತಿಳಿಯಪಡಿಸಿದ್ದೇನೆ.

24.05.25 - "ನನ್ನನ್ನು ಹಿಂಸೆಗೆ ಗುರಿಮಾಡಿದಂತೆ ನಿಮ್ಮನ್ನೂ ಹಿಂಸೆಗೆ ಗುರಿಮಾಡುವರು"

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 16:1-10


ಪೌಲನು ದೆರ್ಬೆಗೂ ಅಲ್ಲಿಂದ ಲುಸ್ತ್ರಕ್ಕೂ ಪ್ರಯಾಣ ಮಾಡಿದನು. ತಿಮೊಥೇಯ ಎಂಬ ಕ್ರೈಸ್ತಭಕ್ತನು ಅಲ್ಲಿ ವಾಸಿಸುತ್ತಿದ್ದನು. ಇವನ ತಾಯಿ ಯೆಹೂದ್ಯಳು ಹಾಗೂ ಕ್ರೈಸ್ತಭಕ್ತಳು. ತಂದೆಯಾದರೋ ಗ್ರೀಕನು. ಲುಸ್ತ್ರ ಮತ್ತು ಇಕೋನಿಯದ ಸಹೋದರರೆಲ್ಲರಿಗೆ ತಿಮೊಥೇಯನ ಬಗ್ಗೆ ಸದಭಿಪ್ರಾಯವಿತ್ತು. ಪೌಲನು ತಿಮೊಥೇಯನನ್ನು ತನ್ನೊಡನೆ ಕರೆದುಕೊಂಡು ಹೋಗಲು ಅಪೇಕ್ಷಿಸಿದನು. ಆ ಪ್ರದೇಶಗಳಲ್ಲಿದ್ದ ಯೆಹೂದ್ಯರಿಗೆ ತಿಮೊಥೇಯನ ತಂದೆ ಗ್ರೀಕನೆಂದು ತಿಳಿದಿದ್ದುದರಿಂದ ಅವನಿಗೆ ಸುನ್ನತಿಮಾಡಿಸಿದನು. ಊರಿಂದ ಊರಿಗೆ ಪ್ರಯಾಣ ಮಾಡುತ್ತಾ, ಜೆರುಸಲೇಮಿನಲ್ಲಿದ್ದ ಪ್ರೇಷಿತರೂ ಸಭಾಪ್ರಮುಖರೂ ನಿರ್ಧರಿಸಿದ ನಿಯಮಗಳನ್ನು ಭಕ್ತರಿಗೆ ಬೋಧಿಸುತ್ತಾ, ಅವುಗಳನ್ನು ಪಾಲಿಸುವಂತೆ ಹೇಳಿದರು. ಹೀಗೆ ಕ್ರೈಸ್ತಸಭೆಗಳು ವಿಶ್ವಾಸದಲ್ಲಿ ದೃಢಗೊಂಡು ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಬೆಳೆಯತೊಡಗಿತು. ಏಷ್ಯದಲ್ಲಿ ಅವರು ಶುಭಸಂದೇಶವನ್ನು ಸಾರಕೂಡದೆಂದು ಪವಿತ್ರಾತ್ಮ ನಿಷೇಧಿಸಿದ್ದರಿಂದ ಅವರು ಫ್ರಿಜಿಯ ಮತ್ತು ಗಲಾತ್ಯಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು. ಮೂಸಿಯದ ಗಡಿಯನ್ನು ತಲುಪಿದಾಗ ಅವರು ಬಿಥೂನಿಯ ಪ್ರಾಂತ್ಯಕ್ಕೆ ಹೋಗಲು ಯತ್ನಿಸಿದರು. ಯೇಸುವಿನ ಆತ್ಮ ಅಲ್ಲಿಗೆ ಹೋಗಲು ಸಹ ಅವರನ್ನು ಬಿಡಲಿಲ್ಲ. ಆದುದರಿಂದ ಅವರು ಮೂಸಿಯವನ್ನು ಹಾದು ನೇರವಾಗಿ ತ್ರೋವಕ್ಕೆ ಹೋದರು. ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು; ಮಕೆದೋನಿಯದ ಒಬ್ಬ ವ್ಯಕ್ತಿ ಅಲ್ಲಿ ನಿಂತು, “ಮಕೆದೋನಿಯಕ್ಕೆ ಬಂದು ನಮಗೆ ಸಹಾಯಮಾಡಿ,” ಎಂದು ಅಂಗಲಾಚಿದನು. ಪೌಲನಿಗೆ ಈ ದರ್ಶನವಾದ ತಕ್ಷಣ ಆ ಜನರಿಗೆ ಶುಭಸಂದೇಶವನ್ನು ಸಾರಲು ದೇವರು ನಮ್ಮನ್ನು ಕರೆದಿದ್ದಾರೆಂದು ನಾವು ಅರಿತುಕೊಂಡು ಮಕೆದೋನಿಯಕ್ಕೆ ಹೋಗಲು ಸಿದ್ಧರಾದೆವು.

ಕೀರ್ತನೆ: 100:1-2, 3, 5
ಶ್ಲೋಕ: ಭೂನಿವಾಸಿಗಳೇ, ಜಯಘೋಷಮಾಡಿ ಪ್ರಭುವಿಗೆ

ಭೂನಿವಾಸಿಗಳೇಜಯಘೋಷ ಮಾಡಿ ಪ್ರಭುವಿಗೆ I
ಅತಿ ಸಂತೋಷದಿಂದ ಸೇವೆ ಮಾಡಿ ಆತನಿಗೆ I
ಹಾಡುತಪಾಡುತಬನ್ನಿ ಆತನ ಸನ್ನಿಧಿಗೆ II
ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು I

ನಮ್ಮ ಸೃಷ್ಟಿಕರ್ತ ಆತನುಆತನವರು ನಾವು I
ಆತನ ಜನಆತನೆ ಮೇಯಿಸುವ ಕುರಿಗಳುನಾವು II

ಹೌದುಪ್ರಭುವೆನಿತೋ ಒಳ್ಳೆಯವನು I
ಇರುವುದಾತನ ಪ್ರೀತಿ ಯುಗಯುಗಕು I
ಆತನ ಸತ್ಯತೆ ತಲತಲಾಂತರಕು II

ಶುಭಸಂದೇಶ: ಯೊವಾನ್ನ 15:18-21

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ಲೋಕವು ನಿಮ್ಮನ್ನು ದ್ವೇಷಿಸಿದರೆ, ನನ್ನ ಮೇಲೆ ಅದಕ್ಕೆ ಮೊದಲೇ ದ್ವೇಷವಿತ್ತೆಂಬುದನ್ನು ನೆನಪಿನಲ್ಲಿಡಿ. ನೀವು ಲೋಕದ ಕಡೆಯವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಮಮತೆಯಿಂದ ಕಾಣುತ್ತಿತ್ತು. ನೀವಾದರೋ ಲೋಕದ ಕಡೆಗೆ ಸೇರಿದವರಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿರುವುದರಿಂದ ನೀವು ಲೋಕದಿಂದ ಬೇರ್ಪಟ್ಟಿದ್ದೀರಿ ಎಂದೇ ಲೋಕಕ್ಕೆ ನಿಮ್ಮ ಮೇಲೆ ದ್ವೇಷವಿದೆ. ಧಣಿಗಿಂತಲೂ ದಾಸನು ದೊಡ್ಡವನಲ್ಲವೆಂದು ನಾನು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿ. ಅವರು ನನ್ನನ್ನು ಹಿಂಸೆಗೆ ಗುರಿಮಾಡಿದಂತೆ ನಿಮ್ಮನ್ನೂ ಹಿಂಸೆಗೆ ಗುರಿಮಾಡುವರು. ನನ್ನ ಬೋಧನೆಯ ಮಾತನ್ನು ಅವರು ಅನುಸರಿಸಿ ನಡೆದರೆ ನಿಮ್ಮ ಬೋಧನೆಯ ಮಾತನ್ನು ಅನುಸರಿಸಿ ನಡೆಯುವರು. ನೀವು ನನ್ನವರಾದುದರಿಂದ ಅವರು ನಿಮ್ಮನ್ನು ಹೀಗೆ ಕಾಣುವರು. ಏಕೆಂದರೆ ನನ್ನನ್ನು ಕಳುಹಿಸಿದಾತನನ್ನು ಅವರು ಅರಿಯರು."

23.05.25 - "ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31

ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಬೇಕೆಂದು ನಿರ್ಧರಿಸಿದರು. ಅಂತೆಯೇ, ಸಹೋದರರಲ್ಲಿ ಬಹು ಗೌರವಾನ್ವಿತರಾದ ಬಾರ್ನಬ ಎಂದು ಕರೆಯಲಾದ ಯೂದ ಮತ್ತು ಸೀಲ ಎಂಬ ಇಬ್ಬರನ್ನು ಆರಿಸಿದರು. ಈ ಕೆಳಗಿನ ಪತ್ರವನ್ನು ಬರೆದು ಅವರ ಕೈಯಲ್ಲಿ ಕಳುಹಿಸಿದರು. “ಅಂತಿಯೋಕ್ಯ, ಸಿರಿಯ ಮತ್ತು ಸಿಲಿಸಿಯಗಳಲ್ಲಿ ವಾಸಿಸುವ ಯೆಹೂದ್ಯೇತರ ಸಹೋದರರಿಗೆ - ಪ್ರೇಷಿತರೂ ಸಭಾಪ್ರಮುಖರೂ ನಿಮ್ಮ ಸಹೋದರರೂ ಆದ ನಮ್ಮ ಶುಭಾಶಯಗಳು! ನಮ್ಮ ಕಡೆಯ ಕೆಲವು ಜನರು ನಮ್ಮಿಂದ ಯಾವ ಆದೇಶವನ್ನೂ ಪಡೆಯದೆ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮ ಮನಸ್ಸನ್ನು ಕಲಕಿದರೆಂಬ ಸಮಾಚಾರ ನಮ್ಮ ಗಮನಕ್ಕೆ ಬಂದಿದೆ. ಆದುದರಿಂದ ನಾವೆಲ್ಲರೂ ಸಭೆಸೇರಿ ಪ್ರತಿನಿಧಿಗಳನ್ನು ಆರಿಸಿ ನಿಮ್ಮಲ್ಲಿಗೆ ಕಳುಹಿಸಲು ನಿರ್ಧರಿಸಿದೆವು. ನಮ್ಮ ಪ್ರಭುವಾದ ಯೇಸುಕ್ರಿಸ್ತರಿಗಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟಿರುವ ನಮ್ಮೊಲವಿನ ಬಾರ್ನಬ ಮತ್ತು ಪೌಲರೊಡನೆ ಈ ಪ್ರತಿನಿಧಿಗಳು ಬರುತ್ತಿದ್ದಾರೆ. ಇವರೇ ನಾವು ಕಳುಹಿಸುತ್ತಿರುವ ಯೂದ ಮತ್ತು ಸೀಲ. ಇವರು ನಾವು ಬರೆದಿರುವುದನ್ನು ನಿಮಗೆ ಖುದ್ದಾಗಿ ತಿಳಿಸುವರು. ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು. ಅದನ್ನು ಸೇವಿಸಬಾರದು; ರಕ್ತವನ್ನಾಗಲಿ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳನ್ನಾಗಲಿ ತಿನ್ನಬಾರದು; ಅನೈತಿಕತೆಯಿಂದ ದೂರವಿರಬೇಕು. ಈ ಅಗತ್ಯ ನಿಯಮಗಳ ಹೊರತು ಬೇರೆ ಯಾವ ಹೊರೆಯನ್ನೂ ನಿಮ್ಮ ಮೇಲೆ ಹೇರುವುದು ವಿಹಿತವಲ್ಲವೆಂಬುದು ಪವಿತ್ರಾತ್ಮ ಅವರ ಹಾಗೂ ನಮ್ಮ ತೀರ್ಮಾನ. ಈ ನಿಯಮಗಳನ್ನು ಅನುಸರಿಸಿದರೆ, ನಿಮಗೆ ಒಳಿತಾಗುವುದು, ನಿಮಗೆ ಶುಭವಾಗಲಿ!” ಅಂತೆಯೇ ಪ್ರತಿನಿಧಿಗಳು ಅಲ್ಲಿಂದ ಅಪ್ಪಣೆಪಡೆದು ಅಂತಿಯೋಕ್ಯಕ್ಕೆ ಹೋದರು. ಅಲ್ಲಿ ಭಕ್ತಸಭೆಯನ್ನು ಒಟ್ಟುಗೂಡಿಸಿ ಅವರಿಗೆ ಆ ಪತ್ರವನ್ನು ಕೊಟ್ಟರು. ಪತ್ರದಲ್ಲಿದ್ದ ಪ್ರೋತ್ಸಾಹದಾಯಕ ಸಂದೇಶವನ್ನು ಓದಿದ್ದೇ - ಭಕ್ತಾದಿಗಳು ಆನಂದಭರಿತರಾದರು.

ಕೀರ್ತನೆ: 57:8-9, 10, 12
ಶ್ಲೋಕ: ನಿನ್ನ ಸ್ತುತಿಸುವೆನು ಪ್ರಭೂ ಜನಾಂಗಗಳ ಮುಂದೆ

ಶುಭಸಂದೇಶ: ಯೊವಾನ್ನ 15:12-17


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ: "ನಾನು ಕೊಡುವ ಆಜ್ಞೆ ಏನೆಂದರೆ: ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಗೆಳೆಯರಿಗಾಗಿ ತನ್ನ ಪ್ರಾಣವನ್ನೇ ಧಾರೆಯೆರೆಯುವ ಪ್ರೀತಿಗಿಂತ ಮಿಗಿಲಾದ ಪ್ರೀತಿ ಯಾರಲ್ಲೂ ಇಲ್ಲ. ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು. ನಾನಿನ್ನು ನಿಮ್ಮನ್ನು ದಾಸರೆಂದು ಕರೆಯುವುದಿಲ್ಲ. ಧಣಿಯ ಕೆಲಸಕಾರ್ಯಗಳು ದಾಸನಿಗೆ ತಿಳಿಯವು. ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ. ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು. ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆ". ಎಂದರು.

22.05.25 - "ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15: 7-21


ಸುದೀರ್ಘ ಚರ್ಚೆಯಾದ ನಂತರ ಪೇತ್ರನು ಎದ್ದು ನಿಂತು ಹೀಗೆಂದನು: “ಸಹೋದರರೇ, ಅನ್ಯ ಧರ್ಮೀಯರು ಶುಭಸಂದೇಶವನ್ನು ನನ್ನ ಬಾಯಿಯಿಂದ ಕೇಳಿ ವಿಶ್ವಾಸಿಸಲೆಂದು ದೇವರು ನಿಮ್ಮ ಮಧ್ಯೆಯಿಂದ ನನ್ನನ್ನು ಬಹುದಿನಗಳ ಹಿಂದೆಯೇ ಆರಿಸಿಕೊಂಡರು. ಇದು ನಿಮಗೆ ತಿಳಿದ ವಿಷಯ. ಮಾನವನ ಅಂತರಂಗವನ್ನು ಅರಿತ ದೇವರು ನಿಮಗೆ ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮ ಅವರನ್ನು ಕೊಟ್ಟರು. ಅವರೂ ತಮ್ಮವರೇ ಎಂದು ವ್ಯಕ್ತಪಡಿಸಿದರು. ಅವರಿಗೂ ನಮಗೂ ಯಾವ ಭೇದ ಭಾವವನ್ನು ತೋರಿಸದೆ ವಿಶ್ವಾಸದ ನಿಮಿತ್ತ ದೇವರು ಅವರ ಪಾಪಗಳನ್ನು ಕ್ಷಮಿಸಿದರು. ಆದುದರಿಂದ ನಮ್ಮ ಪೂರ್ವಜರಿಂದಾಗಲೀ ನಮ್ಮಿಂದಾಗಲೀ ಹೊರಲಾಗದಂಥ ಹೊರೆಯನ್ನು ಈ ಅನುಯಾಯಿಗಳ ಮೇಲೆ ಏಕೆ ಹೊರಿಸುತ್ತೀರಿ? ಹೀಗೆ ದೇವರನ್ನೇಕೆ ಕೆಣಕುತ್ತೀರಿ? ಇಲ್ಲ, ಇದು ಸರಿಯಲ್ಲ. ನಮಗೇ ಆಗಲಿ, ಅವರಿಗೇ ಆಗಲಿ, ಜೀವೋದ್ಧಾರ ದೊರಕುವುದು ಪ್ರಭು ಯೇಸುವಿನ ಅನುಗ್ರಹದಿಂದಲೇ. ಇದೇ ನಮ್ಮ ವಿಶ್ವಾಸ.” ಇದನ್ನು ಕೇಳಿದ್ದೇ, ಸಭೆ ಸೇರಿದ್ದವರೆಲ್ಲರೂ ಮೌನರಾದರು. ಪೌಲ ಮತ್ತು ಬಾರ್ನಬರಿಗೆ ಕಿವಿಗೊಟ್ಟರು. ದೇವರು ಅವರ ಮುಖಾಂತರ ಅನ್ಯ ಧರ್ಮೀಯರ ಮಧ್ಯೆ ಎಸಗಿದ ಸೂಚಕ ಕಾರ್ಯಗಳನ್ನೂ ಅದ್ಭುತ ಕಾರ್ಯಗಳನ್ನೂ ಕುರಿತು ಕೇಳಿದರು. ಇದಾದ ಮೇಲೆ ಯಕೋಬನು ಎದ್ದು ಹೀಗೆಂದನು: “ಸಹೋದರರೇ ಕೇಳಿ, ದೇವರು ಈ ಮೊದಲೇ ಅನ್ಯ ಧರ್ಮೀಯರಲ್ಲಿ ಆಸಕ್ತಿಗೊಂಡು ಅವರಿಂದಲೂ ಸ್ವಂತ ಪ್ರಜೆಯನ್ನು ಆರಿಸಿಕೊಂಡಿದ್ದಾರೆ, ಎಂಬ ವಿಷಯವನ್ನು ಸಿಮೋನನು ಈಗ ತಾನೇ ವಿವರಿಸಿದ್ದಾನೆ. ಇದಕ್ಕೂ ಪ್ರವಾದಿಗಳ ಪ್ರವಚನಗಳಿಗೂ ಪೂರ್ಣ ಸಾಮರಸ್ಯವಿದೆ. ‘ಅಳಿದುಹೋದ ದಾವೀದನ ಮನೆತನವನು ಪುನರ್ಸ್ಥಾಪಿಸಲು ಮರಳಿ ಬರುವೆನು ಪಾಳು ಬಿದ್ದುದನು ಜೀರ್ಣೋದ್ಧಾರ ಗೊಳಿಸುವೆನು ಸುಭದ್ರವಾಗಿ ನಿಲ್ಲಿಸುವೆನು ಅದನ್ನು ನನ್ನವರೆಂದು ನಾನು ಕರೆದ ಎಲ್ಲ ಅನ್ಯಧರ್ಮೀಯರು ಉಳಿದೆಲ್ಲ ಮಾನವರು ನನ್ನತ್ತ ಬರಲಿಹರು ಎಂಬೀ ಸರ್ವೇಶ್ವರನ ನುಡಿ ಎಂದಿನಿಂದಲೋ ತಿಳಿದಿಹುದು.’ “ಆದುದರಿಂದ ನನ್ನ ತೀರ್ಮಾನವೇನೆಂದರೆ: ದೇವರ ಕಡೆಗೆ ತಿರುಗುತ್ತಿರುವ ಅನ್ಯ ಧರ್ಮೀಯರನ್ನು ತೊಂದರೆಗೆ ಈಡು ಮಾಡಬಾರದು. ಅದಕ್ಕೆ ಬದಲಾಗಿ ನಾವು ಅವರಿಗೆ ಪತ್ರ ಬರೆದು, ‘ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು; ಅದನ್ನು ಸೇವಿಸಬಾರದು; ಅನೈತಿಕತೆಯಿಂದ ದೂರವಿರಬೇಕು; ರಕ್ತವನ್ನಾಗಲಿ, ಕುತ್ತಿಗೆ ಹಿಸುಕಿದ ಪ್ರಾಣಿಗಳನ್ನಾಗಲಿ ತಿನ್ನಬಾರದು,’ ಎಂದು ತಿಳುವಳಿಕೆ ಕೊಡಬೇಕು. ಏಕೆಂದರೆ ಪುರಾತನ ಕಾಲಂದಿದಲೂ ಪ್ರತಿಯೊಂದು ಸಬ್ಬತ್‍ ದಿನ ಮೋಶೆಯ ಧರ್ಮಶಾಸ್ತ್ರವನ್ನು ಪ್ರಾರ್ಥನಾ ಮಂದಿರಗಳಲ್ಲಿ ಓದಲಾಗುತ್ತಿದೆ ಮತ್ತು ಆತನ ಬೋಧನೆಯನ್ನು ಪ್ರತಿ ನಗರದಲ್ಲೂ ಸಾರಲಾಗುತ್ತಿದೆ,” ಎಂದನು.

ಕೀರ್ತನೆ: 96: 1-3, 10
ಶ್ಲೋಕ: ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ, ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ. 

ಶುಭಸಂದೇಶ: ಯೊವಾನ್ನ 15:9-11


ಪಿತನು ನನ್ನನ್ನು ಪ್ರೀತಿಸಿದಂತೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನನ್ನ ಪ್ರೀತಿಯಲ್ಲಿ ನೆಲೆಗೊಂಡು ನಿಲ್ಲಿರಿ. ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ. “ನನ್ನಲ್ಲಿರುವ ಆನಂದವು ನಿಮ್ಮಲ್ಲಿ ಇರಬೇಕೆಂತಲೂ ನಿಮ್ಮ ಆನಂದವು ತುಂಬಿ ತುಳುಕಬೇಕೆಂತಲೂ ಇದನ್ನೆಲ್ಲಾ ನಿಮಗೆ ಹೇಳುತ್ತಿದ್ದೇನೆ.

21.05.25 - "ನೀವು ಸಮೃದ್ಧಿಯಾಗಿ ಫಲಕೊಟ್ಟು ನನ್ನ ಶಿಷ್ಯರಾಗಿ ಬೆಳಗುವುದರಿಂದಲೇ ನನ್ನ ಪಿತನ ಮಹಿಮೆ ಪ್ರಕಟವಾಗುವುದು."

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:1-6

ಜುದೇಯದಿಂದ ಕೆಲವು ಜನರು ಅಂತಿಯೋಕ್ಯಕ್ಕೆ ಬಂದು ಅಲ್ಲಿನ ಭಕ್ತ ವಿಶ್ವಾಸಿಗಳಿಗೆ, “ಮೋಶೆಯ ನಿಯಮದಂತೆ ನೀವು ಸುನ್ನತಿ ಮಾಡಿಸಿಕೊಂಡ ಹೊರತು ಜೀವೋದ್ಧಾರ ಪಡೆಯಲಾರಿರಿ,” ಎಂದು ಬೋಧಿಸತೊಡಗಿದರು. ಈ ವಿಷಯವಾಗಿ ಅವರಿಗೂ ಪೌಲ ಮತ್ತು ಬಾರ್ನಬರಿಗೂ ಭಿನ್ನಾಭಿಪ್ರಾಯ ಉಂಟಾಗಿ ತೀವ್ರ ವಿವಾದವೆದ್ದಿತು. ಆದುದರಿಂದ ಈ ಸಮಸ್ಯೆಯ ಬಗ್ಗೆ ಪೌಲ ಮತ್ತು ಬಾರ್ನಬರು ಅಂತಿಯೋಕ್ಯದ ಇನ್ನೂ ಕೆಲವರ ಸಮೇತ ಜೆರುಸಲೇಮಿಗೆ ಹೋಗಿ ಪ್ರೇಷಿತರನ್ನೂ ಪ್ರಮುಖರನ್ನೂ ಕಾಣಬೇಕೆಂದು ತೀರ್ಮಾನಿಸಲಾಯಿತು. ಅಂತೆಯೇ ಕ್ರೈಸ್ತಸಭೆ ಅವರನ್ನು ಬೀಳ್ಕೊಟ್ಟಿತು. ಅವರು ಫೆನಿಷ್ಯ ಹಾಗೂ ಸಮಾರಿಯದ ಮಾರ್ಗವಾಗಿ ಪ್ರಯಾಣಮಾಡುತ್ತಾ ಅಲ್ಲಿಯ ಭಕ್ತವಿಶ್ವಾಸಿಗಳಿಗೆ ಅನ್ಯಧರ್ಮೀಯರು ಹೇಗೆ ಕ್ರೈಸ್ತರಾದರೆಂಬುದನ್ನು ವಿವರಿಸಿದರು. ಇದನ್ನು ಕೇಳಿದ ಭಕ್ತಾದಿಗಳು ಸಂತೋಷಭರಿತರಾದರು. ಪೌಲ, ಬಾರ್ನಬ ಮತ್ತು ಸಂಗಡಿಗರು ಜೆರುಸಲೇಮಿಗೆ ಆಗಮಿಸಿದಾಗ, ಅಲ್ಲಿಯ ಕ್ರೈಸ್ತಸಭೆ ಪ್ರೇಷಿತರ ಹಾಗೂ ಪ್ರಮುಖರ ಸಮೇತ ಅವರನ್ನು ಸ್ವಾಗತಿಸಿತು. ಆಗ ಅವರು, ದೇವರು ತಮ್ಮೊಡನೆ ಇದ್ದು, ಸಾಧಿಸಿದ ಎಲ್ಲಾ ಕಾರ್ಯಗಳನ್ನು ವರದಿಮಾಡಿದರು. ಫರಿಸಾಯ ಪಂಥಕ್ಕೆ ಸೇರಿದ ಕೆಲವು ಭಕ್ತರು ಮಾತ್ರ ಎದ್ದುನಿಂತು, ಅನ್ಯಧರ್ಮೀಯರು ಸುನ್ನತಿಮಾಡಿಸಿಕೊಳ್ಳಲೇಬೇಕು, ಅವರು ಮೋಶೆಯ ನಿಯಮಗಳನ್ನು ಅನುಸರಿಸುವಂತೆ ಆಜ್ಞೆ ಮಾಡಲೇಬೇಕು,” ಎಂದರು. ಈ ಸಮಸ್ಯೆಯನ್ನು ಪರಿಶೀಲಿಸಲು ಪ್ರೇಷಿತರು ಮತ್ತು ಸಭಾಪ್ರಮುಖರು ಸಭೆ ಸೇರಿದರು. 

ಕೀರ್ತನೆ: 122:1-2, 3-4, 4-5
ಶ್ಲೋಕ: ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ, ಆಯಿತೆನಗೆ ಆನಂದ, ಜನರೆನ್ನ ಕರೆದಾಗ.

ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ I
ಆಯಿತೆನಗೆ ಆನಂದಜನರೆನ್ನ ಕರೆದಾಗ II
ನನ್ನ ಕಾಲುಗಳು  ಜೆರುಸಲೇಮೇ I
ತಲುಪಿವೆ ನಿನ್ನ ಪುರದ್ವಾರಗಳನೇ II

ನೋಡುಜೆರುಸಲೇಮ್ ಪಟ್ಟಣವಿದು I
ಗಟ್ಟಿಯಾಗಿಯೆ ಕಟ್ಟಲ್ಪಟ್ಟಿಹುದು II
ಕುಲಗಳು ಯಾತ್ರೆಯಾಗಿ ಬರುವುವು ಇಲ್ಲಿಗೆ I
ಮಾಡುವರಿಲ್ಲಿಯೆ ಪ್ರಭುವಿನ ನಾಮ ಕೀರ್ತನೆ I
ಪಾಲಿಪರಿಂತು ಇಸ್ರೇಲರಿಗೆ ವಿಧಿಸಿದಾಜ್ಞೆ II

ಸ್ಥಾಪಿತವಾಗಿವೆಯಿಲ್ಲಿ ನ್ಯಾಯಪೀಠಗಳು I
ದಾವೀದನ ಮನೆತನದವರ ಸಿಂಹಾಸನಗಳು II

ಶುಭಸಂದೇಶ: ಯೊವಾನ್ನ 15:1-8


“ನಾನೇ ನಿಜವಾದ ದ್ರಾಕ್ಷಾಬಳ್ಳಿ. ನನ್ನ ಪಿತನೇ ತೋಟಗಾರ. ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು. ನೀವಾದರೋ, ನಾನು ನಿಮ್ಮೊಡನೆ ಆಡಿದ ಮಾತಿನಿಂದಾಗಿ ಸವರಿದ ಕವಲುಗಳಂತೆ ಶುದ್ಧರಾಗಿದ್ದೀರಿ. ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನು ನಿಮ್ಮಲ್ಲಿ ನೆಲೆಗೊಂಡಿರುವೆನು. ಕವಲು ಮೂಲಬಳ್ಳಿಯಲ್ಲಿ ಒಂದಾಗಿ ನೆಲಸದಿದ್ದರೆ ತನ್ನಷ್ಟಕ್ಕೆ ತಾನೇ ಫಲಕೊಡಲಾಗದು. ಹಾಗೆಯೇ ನೀವು ಕೂಡ ನನ್ನಲ್ಲಿ ಒಂದಾಗಿ ನೆಲಸದಿದ್ದರೆ ಫಲಕೊಡಲಾರಿರಿ. “ಹೌದು, ನಾನೇ ದ್ರಾಕ್ಷಾಬಳ್ಳಿ; ನೀವೇ ಅದರ ಕವಲುಬಳ್ಳಿಗಳು. ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅಂಥವನು ಸಮೃದ್ಧಿಯಾಗಿ ಫಲಕೊಡುವನು. ಏಕೆಂದರೆ, ನನ್ನಿಂದ ಬೇರ್ಪಟ್ಟು ನಿಮ್ಮಿಂದ ಏನೂ ಮಾಡಲಾಗದು. ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು. “ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು. ನೀವು ಸಮೃದ್ಧಿಯಾಗಿ ಫಲಕೊಟ್ಟು ನನ್ನ ಶಿಷ್ಯರಾಗಿ ಬೆಳಗುವುದರಿಂದಲೇ ನನ್ನ ಪಿತನ ಮಹಿಮೆ ಪ್ರಕಟವಾಗುವುದು.

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...