27.02.10 - ಪರಿಪೂರ್ಣತೆ

ಸಂತ ಮತ್ತಾಯನು ಬರೆದ ಶುಭಸಂದೇಶದಿಂದ ವಾಚನ - 5:43-48

"ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥನೆ ಮಾಡಿರಿ"

ಯೇಸುಸ್ವಾಮಿ ಶಿಷ್ಯರಿಗೆ ಹೀಗೆಂದರು: “ ‘ಮಿತ್ರನನ್ನು ಪ್ರೀತಿಸು, ಶತ್ರುವನ್ನು ದ್ವೇಷಿಸು’ ಎಂದು ಹೇಳಿರುವುದು ನಿಮಗೆ ತಿಳಿದೇ ಇದೆ. ನಾನು ಹೇಳುವುದನ್ನು ಗಮನಿಸಿರಿ: ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥನೆ ಮಾಡಿರಿ. ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ.ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗೆರೆಯುತ್ತಾರೆ.ನಿಮ್ಮನ್ನು ಪ್ರೀತಿಸುವವರನ್ನು ಮಾತ್ರ ನೀವು ಪ್ರೀತಿಸಿದರೆ ಅದರಿಂದೇನು ಫಲ? ಸುಂಕ ವಸೂಲಿ ಮಾಡುವವರೂ ಹಾಗೆ ಮಾಡುವುದಿಲ್ಲವೇ? ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ? ಅನ್ಯ ಜನರೂ ಹಾಗೆ ಮಾಡುತ್ತಾರಲ್ಲವೇ? ಆದುದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.”

26.02.2010 - ಫರಿಸಾಯರ ಧರ್ಮನಿಷ್ಠೆ ಹಾಗೂ ಯೇಸುವಿನ ಸ್ವರ್ಗಸಾಮ್ರಾಜ್ಯ್ಸದ ಪರಿಕಲ್ಪನೆ

ಸಂತ ಮತ್ತಾಯನು ಬರೆದ ಶುಭ ಸಂದೇಶದಿಂದ ವಾಚನ - 5:20-26

"ಧರ್ಮಶಾಸ್ತ್ರಿಗಳ ಹಾಗೂ ಫರಿಸಾಯರ ಧರ್ಮನಿಷ್ಠೆಗಿಂತ ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ"

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: " ಧರ್ಮಶಾಸ್ತ್ರಿಗಳ ಹಾಗೂ ಫರಿಸಾಯರ ಧರ್ಮನಿಷ್ಠೆಗಿಂತ ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ ಎಂಬುದು ನಿಶ್ಚಯ.""ನರಹತ್ಯೆ ಮಾಡಬೇಡ: ನರಹತ್ಯೆ ಮಾಡುವವನು ನ್ಯಾಯ ತೀರ್ಪಿಗೆ ಗುರಿಯಾಗುವನು" ಎಂದು ಪೂರ್ವಿಕರು ಹೇಳಿದ್ದನ್ನು ನೀವು ಕೇಳಿದ್ದೀರಿ. ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ : ತನ್ನ ಸೋದರನ ಮೇಲೆ ನಿಷ್ಕಾರಣವಾಗಿ ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯ ತೀರ್ಪಿಗೆ ಈಡಾಗುವನು;ತನ್ನ ಸೋದರನ ತುಚ್ಛೀಕರಿಸುವವನು ನ್ಯಾಯ ಸಭೆಯ ವಿಚಾರಣೆಗೆ ಗುರಿಯಾಗುವನು.ಆದಕಾರಣ, ಬಲಿಪೀಠದ ಮುಂದೆ ದೇವರಿಗೆ ಕಾಣಿಕೆಯನ್ನು ಅರ್ಪಿಸಲಿರುವಾಗ, ನಿನ್ನ ಸೋದರನಿಗೆ ನಿನ್ನ ಮೇಲೆ ಏನೋ ಮನಸ್ತಾಪವಿದೆ ಎಂಬುದು ನಿನ್ನ ನೆನಪಿಗೆ ಬಂದರೆ, ನಿನ್ನ ಕಾಣಿಕೆಯನ್ನು ಆ ಬಲಿಪೀಠದ ಮುಂದೆಯೇ ಇಟ್ಟು ಬಿಡು. ಮೊದಲು ಹೋಗಿ ನಿನ್ನ ಸೋದರನೊಡನೆ ಸಮಾಧಾನ ಮಾಡಿಕೊ ಅನಂತರ ಬಂದು ನಿನ್ನ ಕಾಣಿಕೆಯನ್ನು ಒಪ್ಪಿಸು. ನಿನ್ನ ಎದುರಾಳಿ ನಿನ್ನನ್ನು ನ್ಯಾಯಸ್ಥಾನಕ್ಕೆ ಎಳೆಯುವಾಗ ಮಾರ್ಗ ಮಧ್ಯದಲ್ಲೇ ಅವನೊಡನೆ ಬೇಗ ಸಂಧಾನ ಮಾಡಿಕೊ. ಇಲ್ಲದಿದ್ದರೆ, ಅವನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿ ನಿನ್ನನ್ನು ಪೋಲಿಸರ ವಶಕ್ಕೆ ಬಿಡಬಹುದು.ಅನಂತರ ನಿನಗೆ ಸೆರೆವಾಸ ಪ್ರಾಪ್ತಿಯಾದೀತು! ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಬಿಡಿಕಾಸನ್ನೂ ಬಿಡದೆ ಎಲ್ಲವನ್ನೂ ತೆರಬೇಕಾಗುವುದು, ಇದನ್ನು ನೆನಪಿನಲ್ಲಿಡು."

25.02.2010 - ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ

ಸಂತ ಮತ್ತಾಯನು ಬರೆದ ಶುಭ ಸಂದೇಶದಿಂದ ವಾಚನ - 7:7-12

"ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿ"

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು :ಕೇಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.ಏಕೆಂದರೆ ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ಕೊಡಲಾಗುವುದು,ಹುಡುಕುವವನಿಗೆ ಸಿಗುವುದು,ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು. ನಿಮ್ಮಲ್ಲಿ ಯಾವನು ತಾನೇ ತನ್ನ ಮಗ ರೊಟ್ಟಿಯನ್ನು ಕೇಳಿದರೆ ಕಲ್ಲನ್ನು ಕೊಟ್ಟಾನು?ಮೀನನ್ನು ಕೇಳಿದರೆ ಹಾವನ್ನು ಕೊಟ್ಟಾನು?ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ,ಅದಕ್ಕಿಂತಲೂ ಎಷ್ಟೋ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಒಳ್ಳೆಯ ಕೊಡುಗೆಗಳನ್ನು ಕೊಡಬಲ್ಲರು!ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿ. ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ ಇದೇ."

24.02.10 - ಸೊಲೊಮೋನ, ಯೋನನಿಗಿಂತಲೂ ಮೇಲಾದವರು!

ಸಂತ ಲೂಕ ಬರೆದ ಶುಭಸಂದೇಶದಿಂದ ವಾಚನ - 11:29-32

"ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.”


ಜನರ ಗುಂಪು ಹೆಚ್ಚುತ್ತಿದ್ದಾಗ,ಯೇಸುಸ್ವಾಮಿ ಹೀಗೆಂದು ಮುಂದುವರಿಸಿದರು:“ಈ ಪೀಳಿಗೆ ಕೆಟ್ಟ ಪೀಳಿಗೆ ಇದು ಅದ್ಭುತಕಾರ್ಯಗಳನ್ನು ಸಂಕೇತವಾಗಿ ಕೋರುತ್ತದೆ.ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಅದಕ್ಕೆ ದೊರಕದು. ಹೇಗೆಂದರೆ, ನಿನವೆ ನಗರದ ಜನರಿಗೆ ಪ್ರವಾದಿ ಯೋನನು ಸಂಕೇತವಾದಂತೆ ನರಪುತ್ರನು ಈ ಸಂತತಿಗೆ ಸಂಕೇತವಾಗಿರುವನು. ದೈವ ತೀರ್ಪಿನ ದಿನ ದಕ್ಷಿಣ ದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತುಕೊಂಡು, ಇವರನ್ನು ಅಪರಾಧಿಗಳೆಂದು ತೋರಿಸುವಳು.ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೇಶದ ಕಟ್ಟಕಡೆಯಿಂದ ಬಂದಳು.

ಆದರೆ ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ. ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿ ಎಂದು ತೋರಿಸುವರು. ಏಕೆಂದರೆ, ಪ್ರವಾದಿ ಯೋನನ ಬೊಧನೆಯನ್ನ್ನು ಕೇಳಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.”

23.02.2010 - ಸರಳ ಪಾರ್ಥನೆ

ಸಂತ ಮತ್ತಾಯನು ಬರೆದ ಶುಭಸಂದೇಶದಿಂದ ವಾಚನ - 6: 7-15

"ಪ್ರಾರ್ಥನೆ ಮಾಡುವಾಗ ಪರಕೀಯರಂತೆ ನಿರರ್ಥಕ ಪದಗಳನ್ನು ಪಿಸಗುಟ್ಟಬೇಡಿ"

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು :ಪ್ರಾರ್ಥನೆ ಮಾಡುವಾಗ ಪರಕೀಯರಂತೆ ನಿರರ್ಥಕ ಪದಗಳನ್ನು ಪಿಸಗುಟ್ಟಬೇಡಿ. ತಮ್ಮ ಪ್ರಾರ್ಥನೆ ದೀರ್ಘವಾದಷ್ಟೂ ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ.ನೀವು ಅವರಂತೆ ಆಗಬೇಡಿ.ನಿಮ್ಮ ಅಗತ್ಯಗಳೇನೆಂಬುದು ನೀವು ಕೇಳುವುದಕ್ಕೆ ಮೊದಲೇ ನಿಮ್ಮ ತಂದೆಗೆ ಗೊತ್ತಿದೆ.ಆದುದರಿಂದ ಹೀಗೆಂದು ಪ್ರಾರ್ಥನೆ ಮಾಡಿ:

‘ಸ್ವರ್ಗದಲ್ಲಿರುವ ಓ ನಮ್ಮ ತಂದೆಯೇ,
ನಿಮ್ಮ ಪವಿತ್ರ ನಾಮ ಪೂಜಿತವಾಗಲಿ;
ನಿಮ್ಮ ಸಾಮ್ರಾಜ್ಯ ಬರಲಿ;
ನಿಮ್ಮ ಚಿತ್ತ ಸ್ವರ್ಗದಲ್ಲಿ ನೆರವೇರುವ ಪ್ರಕಾರ
ಜಗತ್ತಿನಲ್ಲಿಯೂ ನೆರವೇರಲಿ.
ನಮ್ಮ ಅನುದಿನದ ಆಹಾರವನ್ನು ನಮಗಿಂದು ಕೊಡಿ.
ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸುವ ಪ್ರಕಾರ
ನಾವು ಮಾಡಿದ ತಪ್ಪುಗಳನ್ನು ಕ್ಷಮಿಸಿ.
ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ;ಕೇಡಿನಿಂದ ನಮ್ಮನ್ನು ಕ್ಷಮಿಸಿರಿ.’
ಜನರ ತಪ್ಪುಗಳನ್ನು ನೀವು ಕ್ಷಮಿಸಿದರೆ ಸ್ವರ್ಗದಲ್ಲಿರುವ
ನಿಮ್ಮ ತಂದೆ ನಿಮ್ಮನ್ನು ಕ್ಷಮಿಸುವರು
ಜನರನ್ನು ನೀವು ಕ್ಷಮಿಸದಿದ್ದರೆ, ನಿಮ್ಮ ತಂದೆಯೂ
ನಿಮ್ಮ ತಪ್ಪುಗಳನ್ನು ಕ್ಷಮಿಸರು.”

19.02.10 - ಮದುವಣಿಗ ಹಾಗೂ ದು:ಖ

ಸಂತ ಮತ್ತಾಯನು ಬರೆದ ಶುಭ ಸಂದೇಶದಿಂದ ವಾಚನ - 9:14-15

"ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದು:ಖ ಪಡುವುದುಂಟೇ?

ಯೊವಾನ್ನನ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದರು."ನಾವೂ ಫರಿಸಾಯರೂ ಉಪವಾಸ ವ್ರತವನ್ನು ಕೈಗೊಳ್ಳುತ್ತೇವೆ. ಆದರೆ ನಿಮ್ಮ ಶಿಷ್ಯರು ಏಕೆ ಹಾಗೆ ಮಾಡುವುದಿಲ್ಲ?" ಎಂದು ಪ್ರಶ್ನೆ ಹಾಕಿದರು. ಅದಕ್ಕೆ ಯೇಸು "ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದು:ಖ ಪಡುವುದುಂಟೇ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು: ಆಗ ಅವರು ಉಪವಾಸ ಮಾಡುವರು," ಎಂದರು.

18.02.10 -"ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ"

ಸಂತ ಲೂಕನು ಬರೆದ ಶುಭ ಸಂದೇಶದಿಂದ ವಾಚನ - 9:22-25

ಒಬ್ಬನು ಪ್ರಪಂಚವನ್ನೆಲ್ಲಾ ಗೆದ್ದುಕೊಂಡು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅಥವಾ ತೆತ್ತರೆ ಅವನಿಗೆ ಅದರಿಂದ ಬರುವ ಲಾಭವಾದರೂ ಏನು?

ಯೇಸು ಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು:"ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ.ಸಭಾ ಪ್ರಮುಖರಿಂದಲೂ ಮುಖ್ಯ ಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು. ಆದರೆ ಮೂರನೆಯ ದಿನ ಆತನು ಪುನರುತ್ಥಾನ ಹೊಂದುವನು," ಎಂದು ಅವರಿಗೆ ತಿಳಿಸಿದರು.

ಯೇಸುಸ್ವಾಮಿ ಎಲ್ಲರನ್ನೂ ನೋಡಿ ಹೇಳಿದ್ದೇನೆಂದರೆ:"ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ,ಅವನು ತನ್ನನ್ನು ತಾನೇ ಪರಿತ್ಯಜಿಸಿ,ತನ್ನ ಶಿಲುಬೆಯನ್ನು ಅನುದಿನವೂ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಿಸಲಿ.ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು.ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು.ಒಬ್ಬನು ಪ್ರಪಂಚವನ್ನೆಲ್ಲಾ ಗೆದ್ದುಕೊಂಡು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅಥವಾ ತೆತ್ತರೆ ಅವನಿಗೆ ಅದರಿಂದ ಬರುವ ಲಾಭವಾದರೂ ಏನು?

29.08.2026 - ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು

  ಸಂತ ಸ್ನಾನಿಕ ಯೊವಾನ್ನನ ಶಿರಚ್ಛೇದನ ಮೊದಲನೇ ವಾಚನ: ಯೆರೆಮಿಯ: 1: 17-19 ಆದುದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲ...