09.04.2010 - "ಅವರೇ ಪ್ರಭು"

ಸಂತ ಯೊವಾನ್ನನು ಬರೆದ ಶುಭ ಸಂದೇಶದಿಂದ ವಾಚನ - 21:1-14

"ದೋಣಿಯ ಬಲಗಡೆ ಬೆಲೆ ಬೀಸಿರಿ;ಮೀನುಗಳು ಸಿಗುತ್ತವೆ"

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಮತ್ತೂಮ್ಮೆ ತಿಬೇರಿಯ ಸರೋವರದ ಬಳಿ ಕಾಣಿಸಿಕೊಂಡರು. ಅದು ಹೀಗೆ ನಡೆಯಿತು: ಸಿಮೋನ ಪೇತ್ರನು,ದಿದಿಮನೆಂಬ ತೋಮನು, ಗಲಿಲೇಯದ ಕಾನ ಊರಿನ ನತಾನಯೇಲನು, ಜೆಬೆದಾಯನ ಪುತ್ರರು ಮತ್ತು ಯೇಸುವಿನ ಇನ್ನಿಬ್ಬರು ಶಿಷ್ಯರು ಒಟ್ಟಿಗೆ ಸೇರಿದ್ದರು. ಆಗ ಸಿಮೋನ ಪೇತ್ರನು," ನಾನು ಮೀನು ಹಿಡಿಯಲು ಹೋಗುತ್ತೇನೆ," ಎಂದನು.ಮಿಕ್ಕವರು,"ನಾವೂ ನಿನ್ನೊಡನೆ ಬರುತ್ತೇವೆ," ಎಂದರು. ಅವರೆಲ್ಲರೂ ಹೊರಟು ದೋಣಿಯನ್ನು ಹತ್ತಿದರು.ಆ ರಾತ್ರಿಯೆಲ್ಲಾ ಅವರಿಗೆ ಒಂದೂ ಮೀನೂ ಸಿಗಲಿಲ್ಲ.

ಬೆಳಗಾಗುವಷ್ಟರಲ್ಲಿ ಯೇಸು ತೀರದಲ್ಲಿ ನಿಂತಿದ್ದರು.ಆದರೆ ಅವರು ಯೇಸು ಎಂದು ಶಿಷ್ಯರಿಗೆ ಹೊಳೆಯಲಿಲ್ಲ. ಯೇಸು ಅವರಿಗೆ," ಮಕ್ಕಳೇ, ಊಟಕ್ಕೆ ಏನಾದರೂ ಸಿಕ್ಕಿತೇ?" ಎಂದು ಕೇಳಿದರು. "ಏನೂ ಇಲ್ಲ", ಎಂದರು ಅವರು. "ದೋಣಿಯ ಬಲಗಡೆ ಬೆಲೆ ಬೀಸಿರಿ;ಮೀನುಗಳು ಸಿಗುತ್ತವೆ" ಎಂದು ಯೇಸು ಹೇಳಲು ಅವರು ಹಾಗೆಯೇ ಮಾಡಿದರು. ಆಗ ಮೀನುಗಳು ರಾಶಿ ರಾಶಿಯಾಗಿ ಸಿಕ್ಕಿದವು. ಬಲೆಯನ್ನು ಎಳೆಯಲೂ ಆಗದೆ ಹೋಯಿತು. ಆಗ ಯೇಸುವಿನ ಆಪ್ತ ಶಿಷ್ಯನು ಪೇತ್ರನಿಗೆ,"ಅವರೇ ಪ್ರಭು" ಎಂದನು. ಪ್ರಭುವೆಂದು ಕೇಳಿದ್ದೇ ತಡ, ಬರಿ ಮೈಯಲಿದ್ದ ಪೇತ್ರನು ಬಟ್ಟೆಯನ್ನು ಹಾಕಿಕೊಂಡು ನೀರಿಗೆ ಧುಮುಕಿದನು. ಮಿಕ್ಕ ಶಿಷ್ಯರು ಮೀನು ತುಂಬಿದ್ದ ಬಲೆಯನ್ನು ಎಳೆಯುತ್ತಾ ಸುಮಾರು ಮುನ್ನೂರು ಅಡಿ ದೂರದಲ್ಲಿ ಇದ್ದ ದಡಕ್ಕೆ ದೋಣಿಯಲ್ಲೇ ಬಂದರು. ಅವರು ದಡವನ್ನು ಸೇರಿದಾಗ  ಅಲ್ಲಿ ಇದ್ದಲಿನ ಬೆಂಕಿ ಮಾಡಲಾಗಿತ್ತು. ಕೆಂಡದ ಮೇಲೆ ಮೀನುಗಳಿದ್ದವು. ರೊಟ್ಟಿಯೂ ಅಲ್ಲಿತ್ತು. 

ಯೇಸು ಅವರಿಗೆ ,"ನೀವು ಈಗ ತಾನೇ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿ," ಎಂದು ಹೇಳಿದರು. ಸಿಮೋನ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳೆದು ತಂದನು. ಬೆಲೆಯ ತುಂಬ ದೊಡ್ಡ ಮೀನುಗಳು - ಒಟ್ಟಿಗೆ ನೂರೈವತ್ತಮೂರು ಇದ್ದವು. ಅಷ್ಟು ಮೀನುಗಳಿದ್ದರೂ ಬಲೆಯು ಹರಿದಿರಲಿಲ್ಲ. ಯೇಸು ಅವರಿಗೆ," ಬಂದು ಊಟ ಮಾಡಿ," ಎಂದು ಅವರನ್ನು ಕರೆದರು. ಅವರು ಪ್ರಭುವೆಂದು ಅರಿತಿದ್ದ ಕಾರಣ ಶಿಷ್ಯರಲ್ಲಿ ಒಬ್ಬನಿಗಾದರೂ," ನೀವು ಯಾರು?" ಎಂದು ಕೇಳುವಷ್ಟು ಧೈರ್ಯ ಇರಲಿಲ್ಲ. ಯೇಸು ಹತ್ತಿರಕ್ಕೆ ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟರು; ಹಾಗೆಯೇ ಮೀನನ್ನೂ ಕೊಟ್ಟರು. ಯೇಸು ಸತ್ತು ಜೀವಂತರಾಗಿ ಎದ್ದ ಬಳಿಕ ತಮ್ಮ ಶಿಷ್ಯರಿಗೆ  ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.

ಪಾಸ್ಖ ಹಬ್ಬದ ಶುಭಾಶಯಗಳು

ಈ ದಿನ ಕರ್ತರು 
ವೇದದ ನೀತಿಯ ಮೇರೆಗೆ
ಸಾಧಿಸಿ ಉತ್ಥಾನರಾದರು
ಅಲ್ಲೆಲೂಯ ಅಲ್ಲೆಲ್ಲೂಯ ಅಲ್ಲೆಲ್ಲೂಯ

ಚಿಂತೆಯ ತೊಲಗಿಸಿ
ಸಂತಸವನ್ನು ಕರುಣಿಸಿ
ಶಾಂತಿ ಸಮಾಧಾನ ತಂದರು
ಅಲ್ಲೆಲೂಯ ಅಲ್ಲೆಲ್ಲೂಯ ಅಲ್ಲೆಲ್ಲೂಯ

ಪಾಸ್ಖ ಹಬ್ಬದ ಶುಭಾಶಯಗಳು

17.03.2010 - ಪಿತ ಮತ್ತು ಸುತ

ಸಂತ ಯೊವಾನ್ನನು ಬರೆದ ಶುಭಸಂದೇಶದಿಂದ ವಾಚನ  - 5: 17-30

"ಸಜ್ಜನರು ಸಜ್ಜೀವಕ್ಕಾಗಿ ಪುನರುತ್ಥಾನರಾಗುವರು,ದುರ್ಜನರು ದಂಡನಾತೀರ್ಪಿಗಾಗಿ ಪುನರುತ್ಥಾನರಾಗುವರು"

ಯೆಹೂದ್ಯರ ಆಕ್ಷೇಪಣೆಗೆ ಉತ್ತರವಾಗಿ ಯೇಸು, “ನನ್ನ ಪಿತನ ಸತತವೂ ಕಾರ್ಯನಿರತರು. ಅವರಂತೆಯೇ ನಾನು ಸದಾ ಕಾರ್ಯ ನಿರತನಾಗಿದ್ದೇನೆ,” ಎಂದು ನುಡಿದರು. ಯೇಸು ಸಬ್ಬತ್ತಿನ ನಿಯಮವನ್ನು ಮುರಿದುದೇ ಅಲ್ಲದೆ, ದೇವರನ್ನು ತನ್ನ ಪಿತನೆಂದು ಹೇಳಿಕೊಳ್ಳುತ್ತಾ, ತನ್ನನ್ನೇ ದೇವರಿಗೆ ಸರಿಸಮಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಅವರನ್ನು ಕೊಲ್ಲಲ್ಲು ಮತ್ತಷ್ಟು ಹವಣಿಸಿದರು. ಯೇಸುಸ್ವಾಮಿ ಅವರನ್ನು ಉದ್ದೇಶಿಸಿ ಹೀಗೆಂದರು : ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಪುತ್ರನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ಪಿತನು ಮಾಡುವುದನ್ನು ಕಂಡು ತಾನೂ ಹಾಗೆಯೇ ಮಾಡುತ್ತಾನೆ.ಪಿತನು ಮಾಡುವುದನ್ನೇ ಪುತ್ರನೂ ಮಾಡುತ್ತಾನೆ. ಪುತ್ರನೆಂದರೆ ಪಿತನಿಗೆ ಪ್ರೀತಿ. ಆದುದರಿಂದ ತಾವು ಮಾಡುವುದನ್ನೆಲ್ಲಾ ಪುತ್ರನಿಗೆ ತೋರಿಸುತ್ತಾರೆ. ಇದಲ್ಲದೆ ಇನ್ನೂ ಎಷ್ಟೋ ಮಿಗಿಲಾದ ಕಾರ್ಯಗಳನ್ನು ಪುತ್ರನಿಗೆ ತೋರಿಸುತ್ತಾರೆ. ಅವುಗಳನ್ನು ಕಂಡು ನೀವು ಬೆರಗಾಗುವಿರಿ. ಪಿತನು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವವನ್ನು ಕೊಡುವಂತೆ ಪುತ್ರನೂ ತನಗೆ ಬೇಕಾದವರಿಗೆ ಜೀವವನ್ನು ಕೊಡುತ್ತಾನೆ. ಅಲ್ಲದೆ, ಪಿತನು ಯಾರನ್ನೂ ತೀರ್ಪಿಗೆ ಗುರಿ ಮಾಡುವುದಿಲ್ಲ.ತೀರ್ಪು ಕೊಡುವ ಅಧಿಕಾರವನ್ನು ಅವರು ಪುತ್ರನಿಗೆ ಕೊಟ್ಟಿದಾರೆ. ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ. 

ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯ ಜೀವವನ್ನು ಪಡೆದಿರುಯುತ್ತಾನೆ. ಅವನು ಖಂಡನೆಗೆ ಗುರಿಯಾಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ. ಸತ್ಯವಾಗಿ ನಿಮಗೆ ಹೇಳುತ್ತೇನೆ; ಸತ್ತವರು ದೇವರ ಪುತ್ರನ ಧ್ವನಿಯನ್ನು ಕೇಳುವ ಕಾಲ ಬರುವುದು; ಈಗಾಗಲೇ ಬಂದಿದೆ; ಈ ಧ್ವನಿಯನ್ನು ಕೇಳುವವರು ಜೀವಿಸುವರು. ಪಿತನು ತಾವೇ ಸ್ವಯಂ ಜೀವ ಮೂಲವಾಗಿರುವಂತೆ ಪುತ್ರನು ಸಹಾ ಸ್ವಯಂ ಜೀವ  ಮೂಲವಾಗಿರುವಂತೆ ಕರುಣಿಸಿದ್ದಾರೆ. ಅದೂ ಅಲ್ಲದೆ, ಆತನು ನರಪುತ್ರನಾಗಿರುವ ಕಾರಣ ತೀರ್ಪನ್ನು ಕೊಡುವ ಹಕ್ಕು ಆತನಿಗೇ ದಯಪಾಲಿಸಿದ್ದಾರೆ. ಇದನ್ನು ಕೇಳಿ ನೀವು ಬೆರಗಾಗುವುದು ಬೇಡ. ಸತ್ತು ಸಮಾಧಿಯಲ್ಲಿರುವವರೆಲ್ಲರೂ ಅತನ ಧ್ವನಿಯನ್ನು ಕೇಳುವ ಕಾಲ ಬರುವುದು. ಹಾಗೆ ಕೇಳಿದವರೆಲ್ಲಾ ಸಮಾಧಿಯನ್ನು ಬಿಟ್ಟು ಎದ್ದು ಬರುವರು; ಸಜ್ಜನರು ಸಜ್ಜೀವಕ್ಕಾಗಿ ಪುನರುತ್ಥಾನರಾಗುವರು,ದುರ್ಜನರು ದಂಡನಾತೀರ್ಪಿಗಾಗಿ ಪುನರುತ್ಥಾನರಾಗುವರು. ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆ. ಪಿತನು ನನಗೆ ತಿಳಿಸಿದ ಪ್ರಕಾರ ನಾನು ತೀರ್ಪು ಕೊಡುತ್ತೇನೆ. ಈ ನನ್ನ ತೀರ್ಪು ನ್ಯಾಯಬದ್ಧ ಆದುದು. ಏಕೆಂದರೆ ನಾನು ನನ್ನ ಸ್ವಂತ ಇಚ್ಛೆಯನ್ನು ನೆರವೇರಿಸದೆ ಪಿತನ ಚಿತ್ತವನ್ನೇ ನೆರವೇರಿಸಲು ಆಶಿಸುತ್ತೇನೆ.

16.03.10 - ಸಬ್ಬತ್ತ್ ಹಾಗೂ ಸತ್ಕಾರ್ಯ

ಸಂತ ಯೊವಾನ್ನನು ಬರೆದ ಶುಭಸಂದೇಶದಿಂದ ವಾಚನ - 5: 1-3, 5-16

“ಎದ್ದು ನಿಲ್ಲು, ನಿನ್ನ ಹಾಸಿಗೆಯನ್ನು  ಸುತ್ತಿಕೊಂಡು ನಡೆ

ಇದಾದ ಮೇಲೆ ಯೆಹೂದ್ಯರ ಹಬ್ಬ ಬಂದಿತು. ಯೇಸುಸ್ವಾಮಿ ಜೆರುಸಲೇಮಿಗೆ ತೆರಳಿದರು. ಅಲ್ಲಿ, ‘ಕುರಿಬಾಗಿಲು’ ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಹಿಬ್ರಿಯ ಭಾಷೆಯಲ್ಲಿ ‘ಬೆತ್ಸಥ’ ಎಂದು ಕರೆಯುತ್ತಾರೆ. ಕುರುಡರು, ಕುಂಟರು, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಆ ಮಂಟಪಗಳಲ್ಲಿ ಬಿದ್ದುಕೊಳ್ಳುತ್ತಾ ಇದ್ದರು. ಮೂವತ್ತೆಂಟು ವರ್ಷ ಕಾಯಿಲೆಗಳಿಂದ ನರಳುತ್ತಿದ್ದ ಒಬ್ಬ ರೋಗಿ ಅಲ್ಲಿ ಮಲಗಿದ್ದನು. ಯೇಸು ಅವನನ್ನು ನೋಡಿ, ದೀರ್ಘ ಕಾಲದಿಂದ ಅವನು ಹಾಗೆ ಬಿದ್ದುಕೊಂಡಿರುವುದನ್ನು ತಿಳಿದು, ”ನಿನಗೆ ಗುಣಹೊಂದಲು ಮನಸ್ಸಿದೆಯೇ?” ಕೇಳಿದರು. “ಸ್ವಾಮಿ, ನೀರು ಉಕ್ಕಿದ್ದಾಗ ನನ್ನನ್ನು ಕೊಳಕ್ಕಿಳಿಸಲು ಸಹಾಯಕರು ಇರುವುದಿಲ್ಲ; ನಾನು ಹೋಗುವಷ್ಟರಲ್ಲೇ ಯಾರಾದರೂ ಇಳಿದುಬಿಡುತ್ತಾರೆ” ಎಂದು ಉತ್ತರಿಸಿದ ಆ ರೋಗಿ. ಯೇಸು ಅವನಿಗೆ, “ಎದ್ದು ನಿಲ್ಲು, ನಿನ್ನ ಹಾಸಿಗೆಯನ್ನು  ಸುತ್ತಿಕೊಂಡು ನಡೆ” ಎಂದರು. ಆ ಕ್ಷಣವೇ ಅವನು ಗುಣಹೊಂದಿ ತನ್ನ ಹಾಸಿಗೆಯನ್ನು ಸುತ್ತಿಕೊಂಡು ನಡೆಯತೊಡಗಿದನು.

ಅದು ಸಬ್ಬತ್ತಿನ ದಿನವಾಗಿತ್ತು. ಆದುದರಿಂದ ಯೆಹೂದ್ಯ ಅಧಿಕಾರಿಗಳು ಗುಣ ಹೊಂದಿದ ಆ ಮನುಷ್ಯನಿಗೆ “ಇಂದು ಸಬ್ಬತ್ತಿನ ದಿನ. ನೀನು ಹಾಸಿಗೆಯನ್ನು ಎತ್ತಿಕೊಂಡು ನಡೆಯುವುದು ನಿಷಿದ್ಧ,” ಎಂದು ಹೇಳಿದರು. ಅದಕ್ಕೆ ಅವನು: “ನನ್ನನ್ನು ಗುಣಪಡಿಸಿದವರೇ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’, ಎಂದು ಹೇಳಿದರು,” ಎಂದು ಉತ್ತರಕೊಟ್ಟನು. ಅಧಿಕಾರಿಗಳು, “ಅದನ್ನು ಎತ್ತಿಕೊಂಡು ನಡೆ ಎಂದ ಅವನು ಯಾರು?” ಎಂದು ಪ್ರಶ್ನಿಸಿದರು. ತನ್ನನ್ನು ಗುಣಪಡಿಸಿದವರು ಯಾರೆಂದು ಅವನಿಗೆ ತಿಳಿದಿರಲಿಲ್ಲ; ಅಲ್ಲದೆ ಜನಸಂದಣೆಂii ನಿಮಿತ್ತ  ಯೇಸು ಆಗಲೇ ಮರೆಯಾಗಿಬಿಟ್ಟಿದರು. ಅನಂತರ ದೇವಾಲಯದಲ್ಲಿ ಯೇಸು ಮನುಷ್ಯನನ್ನು ಕಂಡು,” ನೋಡು ನೀನು ಗುಣಹೊಂದಿರುವೆ; ಇನ್ನು ಮೇಲೆ ಪಾಪ ಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ನಿನ್ನ ಗತಿ ಇನ್ನಷ್ಟು ಚಿಂತಾಜನಕವಾದೀತು.” ಎಂದರು. ಆ ಮನುಷ್ಯ ಯೆಹೂದ್ಯರ ಬಳಿಗೆ ಹೋಗಿ, “ನನ್ನನ್ನು ಗುಣಪಡಿಸಿದವರು ಯೇಸುವೇ,” ಎಂದು ತಿಳಿಸಿದನು. ಯೇಸು ಇದನ್ನು  ಸಬ್ಬತ್ತ್ ದಿನದಲ್ಲಿ ಮಾಡಿದ್ದರಿಂದ ಯೆಹೂದ್ಯರು ಅವರಿಗೆ ಕಿರುಕುಳ ಕೊಡಲು ತೊಡಗಿದರು.

12.03.10 - ಎರಡು ಆಜ್ಞೆಗಳು

ಸಂತ ಮಾರ್ಕನು ಬರೆದ ಶುಭ ಸಂದೇಶದಿಂದ ವಾಚನ - 12:28-34

"ಅವರನ್ನು ನಾವು ಪೂರ್ಣ ಹೃದಯದಿಂದಲೂ ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು"

ಧರ್ಮ ಶಾಸ್ತ್ರಿ ಒಬ್ಬನು, ಯೇಸುಸ್ವಾಮಿ ಸದ್ದುಕಾಯರಿಗೆ ಸಮರ್ಪಕವಾದ ಉತ್ತರವನ್ನು ಕೊಟ್ಟಿದ್ದನು ಮೆಚ್ಚಿ, ಅವರ ಬಳಿಗೆ ಬಂದು,"ಆಜ್ಞೆಗಳಲ್ಲೆಲ್ಲಾ ಪ್ರಪ್ರಥಮ ಆಜ್ಞೆ ಯಾವುದು?"ಎಂದು ಕೇಳಿದನು. ಯೇಸು ಅವನಿಗೆ, "ಇಸ್ರಯೇಲ್ ಸಮಾಜವೇ ಕೇಳು : ನಮ್ಮ ದೇವರಾದ ಸರ್ವೇಶ್ವರ ಏಕೈಕ ಸರ್ವೇಶ್ವರ; ನಿನ್ನ ದೇವರಾದ ಸರ್ವೇಶ್ವರನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸು. ಇದೇ ಪ್ರಪ್ರಥಮ ಆಜ್ಞೆ. ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನೂ ಪ್ರೀತಿಸು. ಇದೇ ಎರಡನೇಯ ಆಜ್ಞೆ .ಇವರೆಡು ಆಜ್ಞೆಗಳಿಗಿಂತ ಶ್ರೇಷ್ಠವಾದ ಆಜ್ಞೆ ಬೇರೊಂದೂ ಇಲ್ಲ," ಎಂದರು. ಇದನ್ನು ಕೇಳಿದ ಆ ಧರ್ಮಶಾಸ್ತ್ರಿ "ಬೋಧಕರೇ ಚೆನ್ನಾಗಿ ಹೇಳಿದಿರಿ, ದೇವರು ಒಬ್ಬರೇ, ಅವರ ಹೊರತು ಬೇರೆ ದೇವರಿಲ್ಲ, ಎಂದು ನೀವು ಹೇಳಿದ್ದು ಸತ್ಯ; ಅವರನ್ನು ನಾವು ಪೂರ್ಣ ಹೃದಯದಿಂದಲೂ ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇವು ಎಲ್ಲಾ ದಹನ ಬಲಿಗಳಿಗಿಂತಲೂ ಯಜ್ಞ ಯುಗಾದಿಗಿಂತಲೂ ಎಷ್ಟೋ ಮೇಲಾದವು." ಎಂದನು. ಅವನ ವಿವೇಕಪೂರ್ಣವಾದ ಉತ್ತರವನ್ನು ಮೆಚ್ಚಿ ಯೇಸು," ನೀನು ದೇವರ ಸಾಮ್ರಾಜ್ಯ್ಸದಿಂದ ದೂರವಿಲ್ಲ." ಎಂದರು. ಇದಾದ ಬಳಿಕ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರೊಬ್ಬರೂ ಧೈರ್ಯಗೊಳ್ಳಲಿಲ್ಲ.

11.03.10 - ಶೇಖರಿಸದವನು ಚದುರಿಸುತ್ತಾನೆ

ಸಂತ ಲೂಕನು ಬರೆದ ಶುಭ ಸಂದೇಶದಿಂದ ವಾಚನ - 11:14-23

"ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ"

ಒಮ್ಮೆ ಯೇಸುಸ್ವಾಮಿ ಒಂದು ಮೂಕ ದೆವ್ವವನ್ನು ಬಿಡಿಸುತ್ತಿದ್ದರು.ಆ ದೆವ್ವ ಬಿಟ್ಟು ಹೋದ ಮೇಲೆ ಮೂಕನು ಮಾತನಾಡಿದನು.
ಜನರು ಆಶ್ಚರ್ಯಚಕಿತರಾದರು. ಆದರೆ ಅವರಲ್ಲಿ ಕೆಲವರು," ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ" ಎಂದರು. ಬೇರೆ ಕೆಲವರು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ಸ್ವರ್ಗದಿಂದ ಒಂದು ಅದ್ಭುತಕಾರ್ಯವನ್ನು ಮಾಡಿ ತೋರಿಸುವಂತೆ ಕೇಳಿದರು.ಅವರ ಅಲೋಚನೆಗಳನ್ನು ಅರಿತುಕೊಂಡ ಯೇಸು," ಅಂತ:ಕಲಹದಿಂದ ಒಡೆದು ಹೋಗಿರುವ ಪ್ರತಿಯೊಂದು ರಾಜ್ಯನಾಶವಾಗುವುದು; ಕುಟುಂಬ ಕುಟುಂಬಗಳು ಕಚ್ಚಾಡಿ ಹಾಳಾಗುವುವು.ಅಂತೆಯೇ ಸೈತಾನನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯ ಹೇಗೆ ತಾನೆ ಉಳಿದೀತು. ನಾನು ಬೆಲ್ಜಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾವ ಶಕ್ತಿಯಿಂದ ಬಿಡಿಸುತ್ತಾರೆ. ಆದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು. ನಾನು ದೇವರ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ಸಾಮ್ರಾಜ್ಯ ಈಗಲೇ ನಿಮ್ಮಲ್ಲಿಗೆ ಈಗಾಗಲೇ ಬಂದಿದೆ ಎಂಬುದು ಸ್ಪಷ್ಟ.ಬಲಿಷ್ಠನೊಬ್ಬನು ಸರ್ವಾಯುಧಗಳಿಂದ ಸಜ್ಜಿತನಾಗಿ ತನ್ನ ಮನೆಗೆ ಕಾವಲಿರುವಾಗ ಅವನ ಆಸ್ತಿಯೆಲ್ಲಾ ಸುರಕ್ಷಿತವಾಗಿರುತ್ತದೆ.ಆದರೆ ಇವನಿಗಿಂತಲೂ ಬಲಿಷ್ಠನು ಎದುರಿಸಿ ಬಂದು ಇವನನ್ನು ಗೆದ್ದಾಗ, ಇವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು,ಸುಲಿಗೆಯನ್ನು ಹಂಚಿಕೊಡುತ್ತಾನೆ. ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ.ನನ್ನೊಡನೆ ಶೇಖರಿಸದವನು ಚದುರಿಸುತ್ತಾನೆ." ಎಂದರು.

10.03.10 - ಧರ್ಮಶಾಸ್ತ್ರದ ಮಹತ್ವ

ಸಂತ ಮತ್ತಾಯನು ಬರೆದ ಶುಭ ಸಂದೇಶದಿಂದ ವಾಚನ - 5:17-19

"ಧರ್ಮಶಾಸ್ತ್ರದ ಅಕ್ಷರವಾಗಲಿ ಚುಕ್ಕೆಯಾಗಲಿ ನಿರರ್ಥಕವಾಗದೆಂದು"

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು : ಮೋಶೆಯ ಧರ್ಮಶಾಸ್ತ್ರವನ್ನಾಗಲಿ, ಪ್ರವಾದಿಗಳ ಪ್ರವಚನವನ್ನಾಗಲಿ ರದ್ದು ಮಾಡಲು ನಾನು ಬಂದೆನೆಂದು ತಿಳಿಯಬೇಡಿ ರದ್ದು ಮಾಡಲು ಅಲ್ಲ ಅವುಗಲನ್ನು ಸಿದ್ಧಿಗೆ ತರಲು ಬಂದಿದ್ದೇನೆ. ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರೆವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.ಹೀಗಿರುವಲ್ಲಿ, ಅದರ ಆಜ್ಞೆಗಳಲ್ಲಿ ಅತಿ ಚಿಕ್ಕದೊಂದನ್ನು ಮೀರುವವನು,ಮೀರುವಂತೆ ಜನರಿಗೆ ಬೋಧಿಸುವವನು ಸ್ವರ್ಗಸಾಮ್ರಾಜ್ಯದಲ್ಲಿ ಅತ್ಯಲ್ಪನೆಂದು ಪರಿಗಣಿತನಾಗುವನು. ಧರ್ಮಶಾಸ್ತ್ರವನ್ನು ಪಾಲಿಸುವವನು,ಪಾಲಿಸುವಂತೆ ಜನರಿಗೆ ಬೋಧಿಸುವವನು,ಸ್ವರ್ಗಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು.

30.08.2026 - ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ

  ಮೊದಲನೇ ವಾಚನ: ಪ್ರವಾದಿ ಯೆರೆಮೀಯನ ಗ್ರಂಥ 20:7-9 ಸರ್ವೇಶ್ವರಾ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆ. ನೀವು ನನ್ನನ್ನು ಗೆದ್ದುಬಿಟ್ಟಿರಿ, ನೀವು ನನಗಿಂ...