ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

20.05.22- "ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31

ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಬೇಕೆಂದು ನಿರ್ಧರಿಸಿದರು. ಅಂತೆಯೇ, ಸಹೋದರರಲ್ಲಿ ಬಹು ಗೌರವಾನ್ವಿತರಾದ ಬಾರ್ನಬ ಎಂದು ಕರೆಯಲಾದ ಯೂದ ಮತ್ತು ಸೀಲ ಎಂಬ ಇಬ್ಬರನ್ನು ಆರಿಸಿದರು. ಈ ಕೆಳಗಿನ ಪತ್ರವನ್ನು ಬರೆದು ಅವರ ಕೈಯಲ್ಲಿ ಕಳುಹಿಸಿದರು. “ಅಂತಿಯೋಕ್ಯ, ಸಿರಿಯ ಮತ್ತು ಸಿಲಿಸಿಯಗಳಲ್ಲಿ ವಾಸಿಸುವ ಯೆಹೂದ್ಯೇತರ ಸಹೋದರರಿಗೆ - ಪ್ರೇಷಿತರೂ ಸಭಾಪ್ರಮುಖರೂ ನಿಮ್ಮ ಸಹೋದರರೂ ಆದ ನಮ್ಮ ಶುಭಾಶಯಗಳು! ನಮ್ಮ ಕಡೆಯ ಕೆಲವು ಜನರು ನಮ್ಮಿಂದ ಯಾವ ಆದೇಶವನ್ನೂ ಪಡೆಯದೆ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮ ಮನಸ್ಸನ್ನು ಕಲಕಿದರೆಂಬ ಸಮಾಚಾರ ನಮ್ಮ ಗಮನಕ್ಕೆ ಬಂದಿದೆ. ಆದುದರಿಂದ ನಾವೆಲ್ಲರೂ ಸಭೆಸೇರಿ ಪ್ರತಿನಿಧಿಗಳನ್ನು ಆರಿಸಿ ನಿಮ್ಮಲ್ಲಿಗೆ ಕಳುಹಿಸಲು ನಿರ್ಧರಿಸಿದೆವು. ನಮ್ಮ ಪ್ರಭುವಾದ ಯೇಸುಕ್ರಿಸ್ತರಿಗಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟಿರುವ ನಮ್ಮೊಲವಿನ ಬಾರ್ನಬ ಮತ್ತು ಪೌಲರೊಡನೆ ಈ ಪ್ರತಿನಿಧಿಗಳು ಬರುತ್ತಿದ್ದಾರೆ. ಇವರೇ ನಾವು ಕಳುಹಿಸುತ್ತಿರುವ ಯೂದ ಮತ್ತು ಸೀಲ. ಇವರು ನಾವು ಬರೆದಿರುವುದನ್ನು ನಿಮಗೆ ಖುದ್ದಾಗಿ ತಿಳಿಸುವರು. ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು. ಅದನ್ನು ಸೇವಿಸಬಾರದು; ರಕ್ತವನ್ನಾಗಲಿ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳನ್ನಾಗಲಿ ತಿನ್ನಬಾರದು; ಅನೈತಿಕತೆಯಿಂದ ದೂರವಿರಬೇಕು. ಈ ಅಗತ್ಯ ನಿಯಮಗಳ ಹೊರತು ಬೇರೆ ಯಾವ ಹೊರೆಯನ್ನೂ ನಿಮ್ಮ ಮೇಲೆ ಹೇರುವುದು ವಿಹಿತವಲ್ಲವೆಂಬುದು ಪವಿತ್ರಾತ್ಮ ಅವರ ಹಾಗೂ ನಮ್ಮ ತೀರ್ಮಾನ. ಈ ನಿಯಮಗಳನ್ನು ಅನುಸರಿಸಿದರೆ, ನಿಮಗೆ ಒಳಿತಾಗುವುದು, ನಿಮಗೆ ಶುಭವಾಗಲಿ!” ಅಂತೆಯೇ ಪ್ರತಿನಿಧಿಗಳು ಅಲ್ಲಿಂದ ಅಪ್ಪಣೆಪಡೆದು ಅಂತಿಯೋಕ್ಯಕ್ಕೆ ಹೋದರು. ಅಲ್ಲಿ ಭಕ್ತಸಭೆಯನ್ನು ಒಟ್ಟುಗೂಡಿಸಿ ಅವರಿಗೆ ಆ ಪತ್ರವನ್ನು ಕೊಟ್ಟರು. ಪತ್ರದಲ್ಲಿದ್ದ ಪ್ರೋತ್ಸಾಹದಾಯಕ ಸಂದೇಶವನ್ನು ಓದಿದ್ದೇ - ಭಕ್ತಾದಿಗಳು ಆನಂದಭರಿತರಾದರು.

ಕೀರ್ತನೆ: 57:8-9, 10, 12
ಶ್ಲೋಕ: ನಿನ್ನ ಸ್ತುತಿಸುವೆನು ಪ್ರಭೂ ಜನಾಂಗಗಳ ಮುಂದೆ

ಶುಭಸಂದೇಶ: ಯೊವಾನ್ನ 15:12-17


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ: "ನಾನು ಕೊಡುವ ಆಜ್ಞೆ ಏನೆಂದರೆ: ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಗೆಳೆಯರಿಗಾಗಿ ತನ್ನ ಪ್ರಾಣವನ್ನೇ ಧಾರೆಯೆರೆಯುವ ಪ್ರೀತಿಗಿಂತ ಮಿಗಿಲಾದ ಪ್ರೀತಿ ಯಾರಲ್ಲೂ ಇಲ್ಲ. ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು. ನಾನಿನ್ನು ನಿಮ್ಮನ್ನು ದಾಸರೆಂದು ಕರೆಯುವುದಿಲ್ಲ. ಧಣಿಯ ಕೆಲಸಕಾರ್ಯಗಳು ದಾಸನಿಗೆ ತಿಳಿಯವು. ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ. ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು. ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆ". ಎಂದರು.

19.05.22 - "ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15: 7-21


ಸುದೀರ್ಘ ಚರ್ಚೆಯಾದ ನಂತರ ಪೇತ್ರನು ಎದ್ದು ನಿಂತು ಹೀಗೆಂದನು: “ಸಹೋದರರೇ, ಅನ್ಯ ಧರ್ಮೀಯರು ಶುಭಸಂದೇಶವನ್ನು ನನ್ನ ಬಾಯಿಯಿಂದ ಕೇಳಿ ವಿಶ್ವಾಸಿಸಲೆಂದು ದೇವರು ನಿಮ್ಮ ಮಧ್ಯೆಯಿಂದ ನನ್ನನ್ನು ಬಹುದಿನಗಳ ಹಿಂದೆಯೇ ಆರಿಸಿಕೊಂಡರು. ಇದು ನಿಮಗೆ ತಿಳಿದ ವಿಷಯ. ಮಾನವನ ಅಂತರಂಗವನ್ನು ಅರಿತ ದೇವರು ನಿಮಗೆ ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮ ಅವರನ್ನು ಕೊಟ್ಟರು. ಅವರೂ ತಮ್ಮವರೇ ಎಂದು ವ್ಯಕ್ತಪಡಿಸಿದರು. ಅವರಿಗೂ ನಮಗೂ ಯಾವ ಭೇದ ಭಾವವನ್ನು ತೋರಿಸದೆ ವಿಶ್ವಾಸದ ನಿಮಿತ್ತ ದೇವರು ಅವರ ಪಾಪಗಳನ್ನು ಕ್ಷಮಿಸಿದರು. ಆದುದರಿಂದ ನಮ್ಮ ಪೂರ್ವಜರಿಂದಾಗಲೀ ನಮ್ಮಿಂದಾಗಲೀ ಹೊರಲಾಗದಂಥ ಹೊರೆಯನ್ನು ಈ ಅನುಯಾಯಿಗಳ ಮೇಲೆ ಏಕೆ ಹೊರಿಸುತ್ತೀರಿ? ಹೀಗೆ ದೇವರನ್ನೇಕೆ ಕೆಣಕುತ್ತೀರಿ? ಇಲ್ಲ, ಇದು ಸರಿಯಲ್ಲ. ನಮಗೇ ಆಗಲಿ, ಅವರಿಗೇ ಆಗಲಿ, ಜೀವೋದ್ಧಾರ ದೊರಕುವುದು ಪ್ರಭು ಯೇಸುವಿನ ಅನುಗ್ರಹದಿಂದಲೇ. ಇದೇ ನಮ್ಮ ವಿಶ್ವಾಸ.” ಇದನ್ನು ಕೇಳಿದ್ದೇ, ಸಭೆ ಸೇರಿದ್ದವರೆಲ್ಲರೂ ಮೌನರಾದರು. ಪೌಲ ಮತ್ತು ಬಾರ್ನಬರಿಗೆ ಕಿವಿಗೊಟ್ಟರು. ದೇವರು ಅವರ ಮುಖಾಂತರ ಅನ್ಯ ಧರ್ಮೀಯರ ಮಧ್ಯೆ ಎಸಗಿದ ಸೂಚಕ ಕಾರ್ಯಗಳನ್ನೂ ಅದ್ಭುತ ಕಾರ್ಯಗಳನ್ನೂ ಕುರಿತು ಕೇಳಿದರು. ಇದಾದ ಮೇಲೆ ಯಕೋಬನು ಎದ್ದು ಹೀಗೆಂದನು: “ಸಹೋದರರೇ ಕೇಳಿ, ದೇವರು ಈ ಮೊದಲೇ ಅನ್ಯ ಧರ್ಮೀಯರಲ್ಲಿ ಆಸಕ್ತಿಗೊಂಡು ಅವರಿಂದಲೂ ಸ್ವಂತ ಪ್ರಜೆಯನ್ನು ಆರಿಸಿಕೊಂಡಿದ್ದಾರೆ, ಎಂಬ ವಿಷಯವನ್ನು ಸಿಮೋನನು ಈಗ ತಾನೇ ವಿವರಿಸಿದ್ದಾನೆ. ಇದಕ್ಕೂ ಪ್ರವಾದಿಗಳ ಪ್ರವಚನಗಳಿಗೂ ಪೂರ್ಣ ಸಾಮರಸ್ಯವಿದೆ. ‘ಅಳಿದುಹೋದ ದಾವೀದನ ಮನೆತನವನು ಪುನರ್ಸ್ಥಾಪಿಸಲು ಮರಳಿ ಬರುವೆನು ಪಾಳು ಬಿದ್ದುದನು ಜೀರ್ಣೋದ್ಧಾರ ಗೊಳಿಸುವೆನು ಸುಭದ್ರವಾಗಿ ನಿಲ್ಲಿಸುವೆನು ಅದನ್ನು ನನ್ನವರೆಂದು ನಾನು ಕರೆದ ಎಲ್ಲ ಅನ್ಯಧರ್ಮೀಯರು ಉಳಿದೆಲ್ಲ ಮಾನವರು ನನ್ನತ್ತ ಬರಲಿಹರು ಎಂಬೀ ಸರ್ವೇಶ್ವರನ ನುಡಿ ಎಂದಿನಿಂದಲೋ ತಿಳಿದಿಹುದು.’ “ಆದುದರಿಂದ ನನ್ನ ತೀರ್ಮಾನವೇನೆಂದರೆ: ದೇವರ ಕಡೆಗೆ ತಿರುಗುತ್ತಿರುವ ಅನ್ಯ ಧರ್ಮೀಯರನ್ನು ತೊಂದರೆಗೆ ಈಡು ಮಾಡಬಾರದು. ಅದಕ್ಕೆ ಬದಲಾಗಿ ನಾವು ಅವರಿಗೆ ಪತ್ರ ಬರೆದು, ‘ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು; ಅದನ್ನು ಸೇವಿಸಬಾರದು; ಅನೈತಿಕತೆಯಿಂದ ದೂರವಿರಬೇಕು; ರಕ್ತವನ್ನಾಗಲಿ, ಕುತ್ತಿಗೆ ಹಿಸುಕಿದ ಪ್ರಾಣಿಗಳನ್ನಾಗಲಿ ತಿನ್ನಬಾರದು,’ ಎಂದು ತಿಳುವಳಿಕೆ ಕೊಡಬೇಕು. ಏಕೆಂದರೆ ಪುರಾತನ ಕಾಲಂದಿದಲೂ ಪ್ರತಿಯೊಂದು ಸಬ್ಬತ್‍ ದಿನ ಮೋಶೆಯ ಧರ್ಮಶಾಸ್ತ್ರವನ್ನು ಪ್ರಾರ್ಥನಾ ಮಂದಿರಗಳಲ್ಲಿ ಓದಲಾಗುತ್ತಿದೆ ಮತ್ತು ಆತನ ಬೋಧನೆಯನ್ನು ಪ್ರತಿ ನಗರದಲ್ಲೂ ಸಾರಲಾಗುತ್ತಿದೆ,” ಎಂದನು.

ಕೀರ್ತನೆ: 96: 1-3, 10
ಶ್ಲೋಕ: ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ, ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ. 

ಶುಭಸಂದೇಶ: ಯೊವಾನ್ನ 15:9-11


ಪಿತನು ನನ್ನನ್ನು ಪ್ರೀತಿಸಿದಂತೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನನ್ನ ಪ್ರೀತಿಯಲ್ಲಿ ನೆಲೆಗೊಂಡು ನಿಲ್ಲಿರಿ. ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ. “ನನ್ನಲ್ಲಿರುವ ಆನಂದವು ನಿಮ್ಮಲ್ಲಿ ಇರಬೇಕೆಂತಲೂ ನಿಮ್ಮ ಆನಂದವು ತುಂಬಿ ತುಳುಕಬೇಕೆಂತಲೂ ಇದನ್ನೆಲ್ಲಾ ನಿಮಗೆ ಹೇಳುತ್ತಿದ್ದೇನೆ.

18.05.22 - "ನೀವು ಸಮೃದ್ಧಿಯಾಗಿ ಫಲಕೊಟ್ಟು ನನ್ನ ಶಿಷ್ಯರಾಗಿ ಬೆಳಗುವುದರಿಂದಲೇ ನನ್ನ ಪಿತನ ಮಹಿಮೆ ಪ್ರಕಟವಾಗುವುದು."

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:1-6

ಜುದೇಯದಿಂದ ಕೆಲವು ಜನರು ಅಂತಿಯೋಕ್ಯಕ್ಕೆ ಬಂದು ಅಲ್ಲಿನ ಭಕ್ತ ವಿಶ್ವಾಸಿಗಳಿಗೆ, “ಮೋಶೆಯ ನಿಯಮದಂತೆ ನೀವು ಸುನ್ನತಿ ಮಾಡಿಸಿಕೊಂಡ ಹೊರತು ಜೀವೋದ್ಧಾರ ಪಡೆಯಲಾರಿರಿ,” ಎಂದು ಬೋಧಿಸತೊಡಗಿದರು. ಈ ವಿಷಯವಾಗಿ ಅವರಿಗೂ ಪೌಲ ಮತ್ತು ಬಾರ್ನಬರಿಗೂ ಭಿನ್ನಾಭಿಪ್ರಾಯ ಉಂಟಾಗಿ ತೀವ್ರ ವಿವಾದವೆದ್ದಿತು. ಆದುದರಿಂದ ಈ ಸಮಸ್ಯೆಯ ಬಗ್ಗೆ ಪೌಲ ಮತ್ತು ಬಾರ್ನಬರು ಅಂತಿಯೋಕ್ಯದ ಇನ್ನೂ ಕೆಲವರ ಸಮೇತ ಜೆರುಸಲೇಮಿಗೆ ಹೋಗಿ ಪ್ರೇಷಿತರನ್ನೂ ಪ್ರಮುಖರನ್ನೂ ಕಾಣಬೇಕೆಂದು ತೀರ್ಮಾನಿಸಲಾಯಿತು. ಅಂತೆಯೇ ಕ್ರೈಸ್ತಸಭೆ ಅವರನ್ನು ಬೀಳ್ಕೊಟ್ಟಿತು. ಅವರು ಫೆನಿಷ್ಯ ಹಾಗೂ ಸಮಾರಿಯದ ಮಾರ್ಗವಾಗಿ ಪ್ರಯಾಣಮಾಡುತ್ತಾ ಅಲ್ಲಿಯ ಭಕ್ತವಿಶ್ವಾಸಿಗಳಿಗೆ ಅನ್ಯಧರ್ಮೀಯರು ಹೇಗೆ ಕ್ರೈಸ್ತರಾದರೆಂಬುದನ್ನು ವಿವರಿಸಿದರು. ಇದನ್ನು ಕೇಳಿದ ಭಕ್ತಾದಿಗಳು ಸಂತೋಷಭರಿತರಾದರು. ಪೌಲ, ಬಾರ್ನಬ ಮತ್ತು ಸಂಗಡಿಗರು ಜೆರುಸಲೇಮಿಗೆ ಆಗಮಿಸಿದಾಗ, ಅಲ್ಲಿಯ ಕ್ರೈಸ್ತಸಭೆ ಪ್ರೇಷಿತರ ಹಾಗೂ ಪ್ರಮುಖರ ಸಮೇತ ಅವರನ್ನು ಸ್ವಾಗತಿಸಿತು. ಆಗ ಅವರು, ದೇವರು ತಮ್ಮೊಡನೆ ಇದ್ದು, ಸಾಧಿಸಿದ ಎಲ್ಲಾ ಕಾರ್ಯಗಳನ್ನು ವರದಿಮಾಡಿದರು. ಫರಿಸಾಯ ಪಂಥಕ್ಕೆ ಸೇರಿದ ಕೆಲವು ಭಕ್ತರು ಮಾತ್ರ ಎದ್ದುನಿಂತು, ಅನ್ಯಧರ್ಮೀಯರು ಸುನ್ನತಿಮಾಡಿಸಿಕೊಳ್ಳಲೇಬೇಕು, ಅವರು ಮೋಶೆಯ ನಿಯಮಗಳನ್ನು ಅನುಸರಿಸುವಂತೆ ಆಜ್ಞೆ ಮಾಡಲೇಬೇಕು,” ಎಂದರು. ಈ ಸಮಸ್ಯೆಯನ್ನು ಪರಿಶೀಲಿಸಲು ಪ್ರೇಷಿತರು ಮತ್ತು ಸಭಾಪ್ರಮುಖರು ಸಭೆ ಸೇರಿದರು. 

ಕೀರ್ತನೆ: 122:1-2, 3-4, 4-5
ಶ್ಲೋಕ: ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ, ಆಯಿತೆನಗೆ ಆನಂದ, ಜನರೆನ್ನ ಕರೆದಾಗ.

ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ I
ಆಯಿತೆನಗೆ ಆನಂದಜನರೆನ್ನ ಕರೆದಾಗ II
ನನ್ನ ಕಾಲುಗಳು  ಜೆರುಸಲೇಮೇ I
ತಲುಪಿವೆ ನಿನ್ನ ಪುರದ್ವಾರಗಳನೇ II

ನೋಡುಜೆರುಸಲೇಮ್ ಪಟ್ಟಣವಿದು I
ಗಟ್ಟಿಯಾಗಿಯೆ ಕಟ್ಟಲ್ಪಟ್ಟಿಹುದು II
ಕುಲಗಳು ಯಾತ್ರೆಯಾಗಿ ಬರುವುವು ಇಲ್ಲಿಗೆ I
ಮಾಡುವರಿಲ್ಲಿಯೆ ಪ್ರಭುವಿನ ನಾಮ ಕೀರ್ತನೆ I
ಪಾಲಿಪರಿಂತು ಇಸ್ರೇಲರಿಗೆ ವಿಧಿಸಿದಾಜ್ಞೆ II

ಸ್ಥಾಪಿತವಾಗಿವೆಯಿಲ್ಲಿ ನ್ಯಾಯಪೀಠಗಳು I
ದಾವೀದನ ಮನೆತನದವರ ಸಿಂಹಾಸನಗಳು II

ಶುಭಸಂದೇಶ: ಯೊವಾನ್ನ 15:1-8


“ನಾನೇ ನಿಜವಾದ ದ್ರಾಕ್ಷಾಬಳ್ಳಿ. ನನ್ನ ಪಿತನೇ ತೋಟಗಾರ. ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು. ನೀವಾದರೋ, ನಾನು ನಿಮ್ಮೊಡನೆ ಆಡಿದ ಮಾತಿನಿಂದಾಗಿ ಸವರಿದ ಕವಲುಗಳಂತೆ ಶುದ್ಧರಾಗಿದ್ದೀರಿ. ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನು ನಿಮ್ಮಲ್ಲಿ ನೆಲೆಗೊಂಡಿರುವೆನು. ಕವಲು ಮೂಲಬಳ್ಳಿಯಲ್ಲಿ ಒಂದಾಗಿ ನೆಲಸದಿದ್ದರೆ ತನ್ನಷ್ಟಕ್ಕೆ ತಾನೇ ಫಲಕೊಡಲಾಗದು. ಹಾಗೆಯೇ ನೀವು ಕೂಡ ನನ್ನಲ್ಲಿ ಒಂದಾಗಿ ನೆಲಸದಿದ್ದರೆ ಫಲಕೊಡಲಾರಿರಿ. “ಹೌದು, ನಾನೇ ದ್ರಾಕ್ಷಾಬಳ್ಳಿ; ನೀವೇ ಅದರ ಕವಲುಬಳ್ಳಿಗಳು. ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅಂಥವನು ಸಮೃದ್ಧಿಯಾಗಿ ಫಲಕೊಡುವನು. ಏಕೆಂದರೆ, ನನ್ನಿಂದ ಬೇರ್ಪಟ್ಟು ನಿಮ್ಮಿಂದ ಏನೂ ಮಾಡಲಾಗದು. ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು. “ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು. ನೀವು ಸಮೃದ್ಧಿಯಾಗಿ ಫಲಕೊಟ್ಟು ನನ್ನ ಶಿಷ್ಯರಾಗಿ ಬೆಳಗುವುದರಿಂದಲೇ ನನ್ನ ಪಿತನ ಮಹಿಮೆ ಪ್ರಕಟವಾಗುವುದು.

17.05.22 - "ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 14:19-28

ಆಗ ಅಂತಿಯೋಕ್ಯ ಮತ್ತು ಇಕೋನಿಯದಿಂದ ಕೆಲವು ಯೆಹೂದ್ಯರು ಅಲ್ಲಿಗೆ ಬಂದರು. ಅವರು ಜನಸಮೂಹವನ್ನು ತಮ್ಮಕಡೆ ಒಲಿಸಿಕೊಂಡು ಪೌಲನ ಮೇಲೆ ಕಲ್ಲುಬೀರಿ, ಅವನು ಸತ್ತನೆಂದು ಭಾವಿಸಿ, ಪಟ್ಟಣದಿಂದ ಹೊರಗೆ ಎಳೆದುಹಾಕಿದರು. ಆದರೆ, ಭಕ್ತವಿಶ್ವಾಸಿಗಳು ಬಂದು ಅವನ ಸುತ್ತಲೂ ನೆರೆದಿದ್ದಾಗ ಅವನು ಎದ್ದು ಪಟ್ಟಣವನ್ನು ಪ್ರವೇಶಿಸಿದನು. ಮರುದಿನ ಅವನು ಬಾರ್ನಬನ ಸಂಗಡ ದೆರ್ಬೆಗೆ ಹೊರಟುಹೋದನು. ದೆರ್ಬೆಯಲ್ಲಿ ಪೌಲ ಮತ್ತು ಬಾರ್ನಬ ಶುಭಸಂದೇಶವನ್ನು ಸಾರಿ ಅನೇಕರನ್ನು ಭಕ್ತವಿಶ್ವಾಸಿಗಳನ್ನಾಗಿ ಮಾಡಿಕೊಂಡರು. ಅನಂತರ ಅಲ್ಲಿಂದ ಲುಸ್ತ್ರಕ್ಕೂ ಇಕೋನಿಯಕ್ಕೂ ಅಂತಿಯೋಕ್ಯಕ್ಕೂ ಹಿಂದಿರುಗಿ ಬಂದರು. ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು. ಇದಲ್ಲದೆ ಪ್ರತಿಯೊಂದು ಕ್ರೈಸ್ತಸಭೆಗೂ ಪ್ರಮುಖರನ್ನು ನೇಮಿಸಿದರು. ಪ್ರಾರ್ಥನೆ ಮತ್ತು ಉಪವಾಸಮಾಡಿ ತಾವು ಅಚಲವಾಗಿ ನಂಬಿದ್ದ ಪ್ರಭುವಿಗೆ ಅವರನ್ನು ಒಪ್ಪಿಸಿದರು. ಇದಾದ ಮೇಲೆ ಪಿಸಿದಿಯ ಪ್ರದೇಶವನ್ನು ದಾಟಿ ಪಾಂಫೀಲಿಯ ಎಂಬಲ್ಲಿಗೆ ಬಂದರು. ಪೆರ್ಗದಲ್ಲಿ ಶುಭಸಂದೇಶವನ್ನು ಸಾರಿ ಅತ್ತಾಲಿಯ ಎಂಬಲ್ಲಿಗೆ ಹೋದರು. ಅಲ್ಲಿಂದ ನೌಕಾಯಾನಮಾಡಿ ಅವರು ಅಂತಿಯೋಕ್ಯಕ್ಕೆ ಮರಳಿದರು. ಈವರೆಗೆ ಮಾಡಿ ಮುಗಿಸಿದ್ದ ಸೇವಾಕಾರ್ಯಕ್ಕಾಗಿ ಅವರು ದೇವರ ಕೃಪಾಶ್ರಯಕ್ಕೆ ಮೊದಲು ಸಮರ್ಪಿತರಾದದ್ದು ಇಲ್ಲಿಯೇ. ಇಲ್ಲಿಗೆ ತಲುಪಿದ ಕೂಡಲೇ ಅವರು ಕ್ರೈಸ್ತಸಭೆಯನ್ನು ಒಟ್ಟುಗೂಡಿಸಿದರು. ದೇವರು ತಮ್ಮೊಡನೆ ಇದ್ದು ಸಾಧಿಸಿದ್ದೆಲ್ಲವನ್ನೂ ವರದಿಮಾಡಿದರು; ಅದೂ ಅಲ್ಲದೆ, ದೇವರು ಅನ್ಯಧರ್ಮೀಯರಿಗೆ ವಿಶ್ವಾಸದ ದ್ವಾರವನ್ನು ಹೇಗೆ ತೆರೆದರೆಂದು ವಿವರಿಸಿದರು. ತರುವಾಯ ಭಕ್ತವಿಶ್ವಾಸಿಗಳ ಸಂಗಡ ಹೆಚ್ಚುಕಾಲ ತಂಗಿದ್ದರು.

ಕೀರ್ತನೆ: 145:10-11, 12-13, 21
ಶ್ಲೋಕ: ಅರಿವರಿಂತು ಜನರು ತನ್ನ ಶೂರಕಾರ್ಯಗಳನು, ಗ್ರಹಿಸುವರು ನಿನ್ನ ರಾಜ್ಯದ ಮಹಿಮೆ ಪ್ರಭಾವವನು.

ಪ್ರಭುನಿನ್ನನು ಸ್ತುತಿಪುದು ಸೃಷ್ಟಿಯೆಲ್ಲವು I
ಕೊಂಡಾಡುವುದು ನಿನ್ನನು ಭಕ್ತ ಸಮೂಹವು II
ಪ್ರಸಿದ್ಧಪಡಿಸುವರು ನಿನ್ನ ರಾಜ್ಯದ ಮಹತ್ವವನು I
ವರ್ಣಿಸುವರವರು ನಿನ್ನ ಶಕ್ತಿ ಸಾಮರ್ಥ್ಯವನು II

ಅರಿವರಿಂತು ಜನರು ನಿನ್ನ ಶೂರ ಕಾರ್ಯಗಳನು I
ಗ್ರಹಿಸುವರು ನಿನ್ನ ರಾಜ್ಯದ ಮಹಿಮೆ ಪ್ರಭಾವವನು II
ಶಾಶ್ವತವಾದುದು ನಿನ್ನ ರಾಜ್ಯವು I
ಇರುವುದೆಂದಿಗು ನಿನ್ನ ಆಳ್ವಿಕೆಯು II

ಸಲಹುವನು ತನ್ನನು ಪ್ರೀತಿಸುವವರೆಲ್ಲರನು I
ನಾಶಮಾಡುವನು ದುರ್ಮಾರ್ಗಿಗಳೆಲ್ಲರನು II

ಶುಭಸಂದೇಶ: ಯೊವಾನ್ನ 14:27-31


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ: "ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ. ನಾನು ಹೊರಟುಹೋಗುತ್ತೇನೆಂದೂ ಮತ್ತೆ ನಿಮ್ಮ ಬಳಿಗೆ ಬರುತ್ತೇನೆಂದೂ ನಾನು ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ಪಿತನ ಬಳಿಗೆ ಹೋಗುತ್ತಿರುವುದನ್ನು ಕುರಿತು ಹಿಗ್ಗುತ್ತಿದ್ದಿರಿ. ಏಕೆಂದರೆ ಪಿತ ನನಗಿಂತಲೂ ಶ್ರೇಷ್ಠರು. ಇದೆಲ್ಲಾ ಈಡೇರುವಾಗ ನೀವು ವಿಶ್ವಾಸಿಸುವಂತೆ ಅದು ಈಡೇರುವುದಕ್ಕೆ ಮುಂಚೆಯೇ ನಿಮಗೆ ತಿಳಿಯಪಡಿಸಿದ್ದೇನೆ. ಇಹದ ಲೋಕಾಧಿಪತಿ ಬರುವ ಸಮಯವಾಯಿತು. ಇನ್ನು ಬಹಳ ಹೊತ್ತು ನಾನು ನಿಮ್ಮೊಡನೆ ಮಾತನಾಡಲು ಕಾಲಾವಕಾಶವಿಲ್ಲ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ. ಆದರೆ ನಾನು ಪಿತನನ್ನು ಪ್ರೀತಿಸುತ್ತೇನೆಂಬುದನ್ನೂ ಅವರು ವಿಧಿಸಿದಂತೆಯೇ ಮಾಡುತ್ತೇನೆ ಎಂಬುದನ್ನೂ ಲೋಕವು ತಿಳಿಯಬೇಕು.” ಎಂದರು.

16.05.22 - “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 14:5-18

ಅನ್ಯಧರ್ಮದವರು ಮತ್ತು ಯೆಹೂದ್ಯರು ತಮ್ಮ ಅಧಿಕಾರಿಗಳೊಡನೆ ಸೇರಿ ಪ್ರೇಷಿತರಿಗೆ ಕಿರುಕುಳಕೊಡಲು ಹಾಗೂ ಅವರ ಮೇಲೆ ಕಲ್ಲು ತೂರಲು ಪ್ರಯತ್ನಿಸಿದರು. ಇದನ್ನರಿತುಕೊಂಡ ಪ್ರೇಷಿತರು ಅಲ್ಲಿಂದ ಪಲಾಯನ ಮಾಡಿ ಲುಕವೋನಿಯದ ಪಟ್ಟಣಗಳಾದ ಲುಸ್ತ್ರ ಮತ್ತು ದೆರ್ಬೆಗೂ ಅದರ ಸುತ್ತಮುತ್ತಲ ಪ್ರದೇಶಗಳಿಗೂ ಹೊರಟುಹೋದರು. ಅಲ್ಲೂ ಶುಭಸಂದೇಶವನ್ನು ಸಾರತೊಡಗಿದರು. ಲುಸ್ತ್ರದಲ್ಲಿ ಒಬ್ಬ ಕುಂಟನಿದ್ದ. ಅವನೊಬ್ಬ ಹುಟ್ಟುಕುಂಟ. ಎಂದೂ ಕಾಲೂರಿ ನಡೆದವನಲ್ಲ. ಒಮ್ಮೆ, ಅವನು ಕುಳಿತಲ್ಲೇ ಪೌಲನ ಮಾತುಗಳನ್ನು ಆಲಿಸುತ್ತಿದ್ದನು. ಆಗ ಪೌಲನು ಅವನನ್ನೇ ದಿಟ್ಟಿಸಿ ನೋಡಿದನು. ಅವನಲ್ಲಿ ಸ್ವಸ್ಥ ಪಡೆಯುವಷ್ಟು ವಿಶ್ವಾಸವನ್ನು ಕಂಡು ಸ್ವರವೆತ್ತಿ, “ಎದ್ದೇಳು, ಕಾಲೂರಿ ನೆಟ್ಟಗೆ ನಿಲ್ಲು,” ಎಂದು ಹೇಳಿದನು. ಆ ಮನುಷ್ಯನು ನೆಗೆದುನಿಂತು ನಡೆಯಲಾರಂಭಿಸಿದನು. ಪೌಲನು ಮಾಡಿದ ಈ ಮಹತ್ಕಾರ್ಯವನ್ನು ಜನಸಮೂಹವು ನೋಡಿತು. “ದೇವರುಗಳೇ ಮನುಷ್ಯರೂಪದಲ್ಲಿ ನಮ್ಮಲ್ಲಿಗೆ ಬಂದಿದ್ದಾರೆ,” ಎಂದು ತಮ್ಮ ಲುಕವೋನಿಯ ಭಾಷೆಯಲ್ಲಿ ಗಟ್ಟಿಯಾಗಿ ಕೂಗಲಾರಂಭಿಸಿದರು. ಆ ಜನರು ಬಾರ್ನಬನನ್ನು ‘ಜೆಯುಸ್’ ದೇವರೆಂದೂ ಪೌಲನು ಮುಖ್ಯ ಭಾಷಣಕಾರನಾದುದರಿಂದ, ಅವನನ್ನು ‘ಹೆರ್ಮೆ’ ದೇವರೆಂದೂ ಕರೆಯಲಾರಂಭಿಸಿದರು. ಆ ಜೆಯುಸ್ ದೇವರ ಗುಡಿ ಪಟ್ಟಣದ ಮುಂದೆಯೇ ಇತ್ತು. ಅಲ್ಲಿಯ ಅರ್ಚಕನು ದ್ವಾರದ ಬಳಿಗೆ ಹೋರಿಗಳನ್ನೂ ಹೂವಿನ ಹಾರಗಳನ್ನೂ ತೆಗೆದುಕೊಂಡು ಬಂದನು. ಜನರೊಡನೆ ಸೇರಿ ಪ್ರೇಷಿತರಿಗೆ ಬಲಿಯನ್ನು ಅರ್ಪಿಸಬೇಕೆಂದಿದ್ದನು. ಇದನ್ನು ಕೇಳಿದ ಬಾರ್ನಬ ಮತ್ತು ಪೌಲರು ಸಿಟ್ಟಿನಿಂದ ತಮ್ಮ ಮೇಲಂಗಿಗಳನ್ನು ಹರಿದು, ಜನಸಂದಣಿಯತ್ತ ಧಾವಿಸಿ ಹೀಗೆಂದು ಕೂಗಿಹೇಳಿದರು: “ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು. ಹಿಂದಿನ ಕಾಲದಲ್ಲಿ ಸಮಸ್ತ ಜನಾಂಗಗಳು ತಮಗೆ ಇಷ್ಟಬಂದಂತೆ ನಡೆಯಲೆಂದು ದೇವರು ಬಿಟ್ಟುಬಿಟ್ಟರು. ಆದರೆ ತಮ್ಮ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಸಾಕ್ಷ್ಯ ನೀಡುತ್ತಲೇ ಬಂದಿದ್ದಾರೆ; ನಿಮಗೆ ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ ಬೆಳೆಯನ್ನೂ ಕೊಡುತ್ತಾ ಆಹಾರವನ್ನು ಒದಗಿಸಿ, ನಿಮ್ಮ ಹೃದಯವನ್ನು ಪರಮಾನಂದಗೊಳಿಸುತ್ತಾ ಬಂದಿದ್ದಾರೆ.” ಪ್ರೇಷಿತರು ಇಷ್ಟು ಹೇಳಿದರೂ ಜನರು ತಮಗೆ ಬಲಿಯರ್ಪಿಸುವುದನ್ನು ತಡೆಯುವುದು ಕಷ್ಟಸಾಧ್ಯವಾಯಿತು.

ಕೀರ್ತನೆ: 115:1-2, 3-4, 15-16
ಶ್ಲೋಕ: ನಮಗಲ್ಲ ಹೇ ಪ್ರಭೂ, ನಮಗಲ್ಲ ಮಹಿಮೆ, ನಿನ್ನ ನಾಮಕೇ ಸಲ್ಲಲಿ ಆ ಮಹಿಮೆ.

ನಮಗಲ್ಲ ಹೇ ಪ್ರಭುನಮಗಲ್ಲ ಮಹಿಮೆ 
ನಿನ್ನ ನಾಮಕೇ ಸಲ್ಲಲಿ ಆ ಮಹಿಮೆ 
ನಿನ್ನ ನೀತಿ ಸತ್ಯತೆಗಳ ನಿಮಿತ್ತವೆ 
ಅನ್ಯಜನರು ನುಡಿಯುವುದೆಂತು
ಅವರ ದೇವರೆಲ್ಲಿ?” ಎಂದು

ಪರದಲ್ಲಿಹನು ನಮ್ಮ ದೇವನು
ಗೈವನು ತನಗಿಷ್ಟ ಬಂದುದನು
ಅವರ ವಿಗ್ರಹ ಬರೀ ಬೆಳ್ಳಿ ಬಂಗಾರ
ಅವು ಮಾನವನ ಕೈ ಕೆಲಸಗಳು ಮಾತ್ರ

ಇಹಪರಗಳನು ಉಂಟುಮಾಡಿದ ಪ್ರಭುವಿಂದ
ಲಭಿಸುವಂತಾಗಲಿ ನಿಮಗೆ ಆಶೀರ್ವಾದ
ಪ್ರಭುವಿಗೆ ಸ್ವಂತವಾದುದು ಪರಲೋಕ 
ನರರಿಗೆ ಕೊಟ್ಟಿಹನಾತನು ಭೂಲೋಕ

ಶುಭಸಂದೇಶ: ಯೊವಾನ್ನ 14:21-26

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ: "ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.” ಆಗ ಯೂದನು, (ಈತ ಇಸ್ಕರಿಯೋತಿನ ಯೂದನಲ್ಲ) “ಪ್ರಭೂ, ನೀವು ಈ ಲೋಕಕ್ಕೆ ನಿಮ್ಮನ್ನು ಸಾಕ್ಷಾತ್ಕರಿಸಿಕೊಳ್ಳದೆ ನಮಗೆ ಮಾತ್ರ ಸಾಕ್ಷಾತ್ಕರಿಸಿಕೊಳ್ಳುತ್ತೀರಲ್ಲಾ, ಏಕೆ?” ಎಂದು ಕೇಳಿದನು. ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು. ನನ್ನನ್ನು ಪ್ರೀತಿಸದೆ ಇರುವವನು ನನ್ನ ಮಾತನ್ನು ಕೈಗೊಂಡು ನಡೆಯುವುದಿಲ್ಲ. ನೀವು ಕೇಳುತ್ತಿರುವ ಮಾತು ನನ್ನದಲ್ಲ, ನನ್ನನ್ನು ಕಳುಹಿಸಿದ ಪಿತನದೇ. ನಾನು ನಿಮ್ಮೊಡನೆ ಇರುವಾಗಲೇ ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಆದರೆ ಪಿತನು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪೋಷಕರಾದ ಪವಿತ್ರಾತ್ಮ ನಿಮಗೆ ಎಲ್ಲವನ್ನೂ ಬೋಧಿಸಿ ನಾನು ಹೇಳಿರುವುದನ್ನೆಲ್ಲಾ ನಿಮ್ಮ ನೆನಪಿಗೆ ತರುವರು." ಎಂದರು.

15.05.22 - "ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಿರಿ"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 14:21-27

ದೆರ್ಬೆಯಲ್ಲಿ ಪೌಲ ಮತ್ತು ಬಾರ್ನಬ ಶುಭಸಂದೇಶವನ್ನು ಸಾರಿ ಅನೇಕರನ್ನು ಭಕ್ತವಿಶ್ವಾಸಿಗಳನ್ನಾಗಿ ಮಾಡಿಕೊಂಡರು. ಅನಂತರ ಅಲ್ಲಿಂದ ಲುಸ್ತ್ರಕ್ಕೂ ಇಕೋನಿಯಕ್ಕೂ ಅಂತಿಯೋಕ್ಯಕ್ಕೂ ಹಿಂದಿರುಗಿ ಬಂದರು. ಅಲ್ಲಿ ಭಕ್ತಾದಿಗಳನ್ನು ದೃಡಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ," ಎಂದು ಬೋಧಿಸಿದರು. ಇದಲ್ಲದೆ ಪ್ರತಿಯೊಂದು ಕ್ರೃಸ್ತಸಭೆಗೂ ಪ್ರಮುಖರನ್ನು ನೇಮಿಸಿದರು. ಪ್ರಾರ್ಥನೆ ಮತ್ತು ಉಪವಾಸ ಮಾಡಿ ತಾವು ಅಚಲವಾಗಿ ನಂಬಿದ್ದ ಪ್ರಭುವಿಗೆ ಅವರನ್ನು ಒಪ್ಪಿಸಿದರು. ಇದಾದ ಮೇಲೆ ಪಿಸಿದಿಯ ಪ್ರದೇಶವನ್ನು ದಾಟಿ ಪಾಂಫೀಲಿಯ ಎಂಬಲ್ಲಿಗೆ ಬಂದರು. ಪೆರ್ಗದಲ್ಲ ಶುಭಸಂದೇಶವನ್ನು ಸಾರಿ ಅತ್ತಾಲಿಯ ಎಂಬಲ್ಲಿಗೆ ಹೋದರು.ಅಲ್ಲಿಂದ ನೌಕಯಾನ ಮಾಡಿ ಅವರು ಅಂತಿಯೋಕ್ಯಕ್ಕೆ ಮರಳಿದರು. ಈವರೆಗೆ ಮಾಡಿ ಮುಗಿಸಿದ್ದ ಸೇವಾಕಾರ್ಯಕ್ಕಾಗಿ ಅವರು ದೇವರ ಕೃಪಾಶ್ರಯಕ್ಕೆ ಮೊದಲು ಸಮರ್ಪಿತರಾದದ್ದು ಇಲ್ಲಿಯೇ. ಇಲ್ಲಿಗೆ ತಲುಪಿದ ಕೂಡಲೇ ಅವರು ಕ್ರೈಸ್ತಸಭೆಯನ್ನು ಒಟ್ಟುಗೂಡಿಸಿದರು. ದೇವರು ತಮ್ಮೊಡನೆ ಇದ್ದು ಸಾಧಿಸಿದ್ದೆಲ್ಲವನ್ನು ವರದಿ ಮಾಡಿದರು; ಅದೂ ಅಲ್ಲದೆ, ದೇವರು ಅನ್ಯಧರ್ಮೀಯರಿಗೆ ವಿಶ್ವಾಸದ ದ್ವಾರವನ್ನು ಹೇಗೆ ತೆರೆದರೆಂದು ವಿವರಿಸಿದರು.

ಕೀರ್ತನೆ: 145:8-9, 10-11, 12-13
ಶ್ಲೋಕ: ದೇವಾ, ನನ್ನೊಡೆಯಾ, ಮಾಡುವೆ ನಿನ್ನ ಗುಣಗಾನ!

ಎರಡನೇ ವಾಚನ: ಪ್ರಕಟನಾಗ್ರಂಥ 21:1-5

ಯೊವಾನ್ನನಾದ ನಾನು ತರುವಾಯ ನೂತನ ಆಕಾಶ ಮಂಡಲನವನ್ನೂ ನೂತನ ಭೂಮಂಡಲವನ್ನೂ ಕಂಡೆ. ಮೊದಲಿದ್ದ ಆಕಾಶಮಂಡಲವೂ ಮೊದಲಿದ್ದ ಭೂಮಂಡಲವೂ ಕಣ್ಮರೆಯಾಗಿ ಹೋದವು. ಸಮೂದ್ರವು ಇನ್ನಿಲ್ಲವಾಯಿತು. ಇದಲ್ಲದೆ, ಪವಿತ್ರ ನಗರವಾದ ನೂತನ ಜೆರುಸಲೇಮ್ ಸ್ವರ್ಗದಿಂದಲೂ ದೇವರ ಸನ್ನಿಧಿಯಿಂದಲೂ ಕೆಳಗಿಳಿದು ಬರುವುದನ್ನು ಕಂಡೆ. ಅದು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಅಲಂಕೃತಳಾದ ಮದುವಣಗಿತ್ತಿಯಂತೆ ಶೃಂಗಾರಮಯವಾಗಿತ್ತು. ಆಗ ಸಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು; "ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ  ಪ್ರಜೆಗಳಾಗುವರು; ದೇವರೇ ಅವರ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ. ಒರಸುವನಾತ ಅವರ ಕಂಬನಿಯನ್ನೆಲ್ಲಾ, ಇರದಿನ್ನು ಸಾವು ನೋವು ಅವರಿಗೆಲ್ಲಾ; ಇರವು ಶೋಕ ದುಖಃಗಳಾವುವು, ಮರೆಯಾಗಿ ಹೋದವು.  ಹಿಂದಿನದೆಲ್ಲವು." ಸಿಂಹಾಸನರೂಢನಾಗಿದ್ದವನು ಆಗ, "ಇಗೋ, ನಾವೆಲ್ಲವನ್ನೂ ಹೊಸದಾಗಿಸುತ್ತೇನೆ," ಎಂದನು. ಅಲ್ಲದೆ ಅವನು, "ಇದನ್ನು ನೀನು ಬರೆ, ಈ ಮಾತುಗಳು ಸತ್ಯವಾದುವು ಹಾಗೂ ವಿಶ್ವಾಸಾರ್ಹವಾದುವು," ಎಂದು ಹೇಳಿದನು.

ಶುಭಸಂದೇಶ:ಯೊವಾನ್ನ 13:31-35


ಯೂದನು ಹೊರಟುಹೋದಮೇಲೆ ಯೇಸುಸ್ವಾಮಿ ಹೀಗೆಂದರು: "ಈಗ ನರಪುತ್ರನ ಮಹಿಮೆ ಪ್ರಕಟವಾಗುವುದು. ಆತನಲ್ಲಿ ದೇವರ ಮಹಿಮೆಯೂ ಪ್ರಕಟವಾಗುವುದು. ದೇವರ ಮಹಿಮೆ ಆತನಲ್ಲಿ ಪ್ರಕಟವಾದರೆ, ದೇವರೇ ನರಪುತ್ರನ ಮಹಿಮೆಯನ್ನು ತಮ್ಮಲ್ಲಿ ಪ್ರಕಟಪಡಿಸುವರು. ತಕ್ಷಣವೇ ಪ್ರಕಟಪಡಿಸುವರು. ಪ್ರಿಯಮಕ್ಕಳೇ, ಇನ್ನು ತುಸುಕಾಲ ಮಾತ್ರ ನಾನು ನಿಮ್ಮೊಡನೆ ಇರುತ್ತೇನೆ, ಆಮೇಲೆ ನೀವು ನನ್ನನ್ನು ಹುಡುಕಿವಿರಿ, 'ಆದರೆ ನಾನು ಹೋಗುವಲ್ಲಿಗೆ ನೀವು ಬರಲಾರಿರಿ" ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಹೇಳುತ್ತೇನೆ. ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಒಬ್ಬರನ್ನೊಬ್ಬರು ಪ್ರೀತಿಸಿರಿ. ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಿರಿ. ನಿಮ್ಮ ಈ ಪರಸ್ಪರ ಪ್ರೀತಿಯನ್ನು ಕಂಡು ನೀವು ನನ್ನ ಶಿಷ್ಯರೆಂದು ಜನರೆಲ್ಲರೂ ಅರಿತುಕೊಳ್ಳುವರು.

14.05.22 - "ಗೆಳೆಯರಿಗಾಗಿ ತನ್ನ ಪ್ರಾಣವನ್ನೇ ಧಾರೆಯೆರೆಯುವ ಪ್ರೀತಿಗಿಂತ ಮಿಗಿಲಾದ ಪ್ರೀತಿ ಯಾರಲ್ಲೂ ಇಲ್ಲ"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 1: 15-17, 20-26

ಸ್ವಲ್ಪ ದಿನಗಳ ನಂತರ ಸುಮಾರು ನೂರ ಇಪ್ಪತ್ತು ಮಂದಿ ಭಕ್ತವಿಶ್ವಾಸಿಗಳು ಸಭೆ ಸೇರಿದ್ದರು. ಆಗ ಪೇತ್ರನು ಎದ್ದುನಿಂತು ಹೀಗೆಂದನು: “ಪ್ರಿಯ ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ಮುಂದಾಳಾಗಿದ್ದವನು ಯೂದನು. ಅವನ ವಿಷಯವಾಗಿ ಪವಿತ್ರಾತ್ಮ ಅವರು ದಾವೀದನ ಮುಖಾಂತರ ಮುಂತಿಳಿಸಿದ ವಾಕ್ಯ ನೆರವೇರಲೇಬೇಕಾಗಿತ್ತು. ಈ ಯೂದನು ನಮ್ಮಲ್ಲಿ ಒಬ್ಬನಾಗಿದ್ದವನು. ನಾವು ಕೈಗೊಂಡಿರುವ ಸೇವೆಯಲ್ಲಿ ಭಾಗಿಯಾಗಲು ಆಯ್ಕೆಯಾಗಿದ್ದವನು. ‘ಅವನ ಮನೆ ಹಾಳಾಗಲಿ, ಅದು ಪಾಳುಬೀಳಲಿ,’ ಎಂದೂ, ‘ಅವನ ಸ್ಥಾನ ಇನ್ನೊಬ್ಬನದಾಗಲಿ,’ ಎಂದೂ ಕೀರ್ತನ ಗ್ರಂಥದಲ್ಲಿ ಬರೆಯಲಾಗಿದೆ. “ಆದುದರಿಂದ ಪ್ರಭು ಯೇಸುವಿನ ಪುನರುತ್ಥಾನಕ್ಕೆ ನಮ್ಮೊಡನೆ ಸಾಕ್ಷಿಯಾಗಿರಲು ಒಬ್ಬನನ್ನು ನಾವು ಆರಿಸಬೇಕಾಗಿದೆ. ಅಂಥವನು ಯೇಸುವಿನ ಸೇವಾಸಂಚಾರದಲ್ಲೆಲ್ಲಾ ನಮ್ಮೊಡನೆ ಇದ್ದವನಾಗಿರಬೇಕು. ಅಂದರೆ, ಸ್ನಾನಿಕ ಯೊವಾನ್ನನು ಸ್ನಾನದೀಕ್ಷೆಯನ್ನು ಕುರಿತು ಬೋಧಿಸಿದ ದಿನದಿಂದ ಯೇಸುವಿನ ಸ್ವರ್ಗಾರೋಹಣದ ದಿನದವರೆಗೂ ನಮ್ಮ ಸಂಗಡ ಇದ್ದವನಾಗಿರಬೇಕು.” ಆಗ ಬಾರ್ನಬ ಎಂದು ಹೆಸರಿಸಲಾದ ಜೋಸೆಫ್ (ಇವನನ್ನು ಯುಸ್ತ ಎಂದೂ ಕರೆಯುತ್ತಿದ್ದರು) ಮತ್ತು ಮತ್ತೀಯ ಎಂಬ ಇಬ್ಬರ ಹೆಸರನ್ನು ಸೂಚಿಸಲಾಯಿತು. ಅನಂತರ ಎಲ್ಲರೂ ಪ್ರಾರ್ಥನೆಮಾಡುತ್ತಾ, “ಸರ್ವೇಶ್ವರಾ, ನೀವು ಸರ್ವರ ಅಂತರಂಗಗಳನ್ನು ಅರಿತಿರುವಿರಿ. ಯೂದನು ತನ್ನ ಪ್ರೇಷಿತಸ್ಥಾನದಿಂದ ಭ್ರಷ್ಟನಾದ, ತನಗೆ ತಕ್ಕುದಾದ ಸ್ಥಳಕ್ಕೆ ತೆರಳಿದ. ಈ ಸೇವಾಸ್ಥಾನಕ್ಕೆ ಇವರಿಬ್ಬರಲ್ಲಿ ನೀವು ಆರಿಸಿದವನು ಯಾರೆಂದು ನಮಗೆ ತೋರಿಸಿರಿ,” ಎಂದರು. ಅನಂತರ ಚೀಟು ಹಾಕಿದರು. ಅದು ಮತ್ತೀಯನ ಪರವಾಗಿತ್ತು. ಅವನನ್ನು ಹನ್ನೊಂದು ಮಂದಿಯೊಡನೆ ಪ್ರೇಷಿತಸ್ಥಾನಕ್ಕೆ ಸೇರಿಸಿಕೊಳ್ಳಲಾಯಿತು.

ಕೀರ್ತನೆ: 113:1-2, 3-4, 5-6, 7-8
ಶ್ಲೋಕ: ಕೂರಿಸುವನಾತ ಅವರನು ಅಧಿಪತಿಗಳ ನಡುವೆ, ತನ್ನ ಪ್ರಜೆಯನಾಳುವಾ ಅಧಿಪತಿಗಳ ನಡುವೆ.

ಅಲ್ಲೆಲೂಯ I
ಪ್ರಭುವಿನ ದಾಸರೇಸ್ತುತಿಮಾಡಿ I
ಪ್ರಭುವಿನ ನಾಮಸ್ತುತಿಯನು ಮಾಡಿ II
ಪ್ರಭುವಿನ ಸಿರಿನಾಮವು ಪೂಜ್ಯ I
ಇಂದಿಗೂ ಎಂದೆಂದಿಗೂ ಪೂಜ್ಯ II

ಪ್ರಭುವಿನಾ ಸಿರಿನಾಮವು ಸ್ತುತ್ಯ I
ಪೂರ್ವ ಪಶ್ಚಿಮದವರೆಗೂ ಸ್ತುತ್ಯ II
ಸಕಲ ಜಾತಿಜನಾಂಗಗಳಲಿ ಪ್ರಭು ಶ್ರೇಷ್ಠ I
ಆತನ ಮಹಿಮೆ ಗಗನಕ್ಕಿಂತಲೂ ಉತ್ಕೃಷ್ಟ II

ನಮ್ಮ ಪ್ರಭು ದೇವನಂತೆ ಯಾರು ಸಮರ್ಥ I
ಉನ್ನತದಲಿ ಆಸನಾರೂಢನು ಆತ I
ಇಹಪರಗಳನು ವೀಕ್ಷಿಸಲಾತ ಶಕ್ತ II

ದೀನರನು ಎಬ್ಬಿಸುವನು ಧೂಳಿನಿಂದ I
ಬಡವರನು ಎತ್ತುವನು ತಿಪ್ಪೆಯಿಂದ II
ಕೂರಿಸುವನಾತ ಅವರನು ಅಧಿಪತಿಗಳ ನಡುವೆ I
ತನ್ನ ಪ್ರಜೆಯನಾಳುವಾ ಅಧಿಪತಿಗಳ ನಡುವೆ II

ಶುಭಸಂದೇಶ: ಯೊವಾನ್ನ 15:9-17

ಯೇಸು ತಮ್ಮ ಶಿಷ್ಯರಿಗೆ ಹೇಳಿದ್ದೇನೆಂದರೆ: "ಪಿತನು ನನ್ನನ್ನು ಪ್ರೀತಿಸಿದಂತೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನನ್ನ ಪ್ರೀತಿಯಲ್ಲಿ ನೆಲೆಗೊಂಡು ನಿಲ್ಲಿರಿ. ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ. “ನನ್ನಲ್ಲಿರುವ ಆನಂದವು ನಿಮ್ಮಲ್ಲಿ ಇರಬೇಕೆಂತಲೂ ನಿಮ್ಮ ಆನಂದವು ತುಂಬಿ ತುಳುಕಬೇಕೆಂತಲೂ ಇದನ್ನೆಲ್ಲಾ ನಿಮಗೆ ಹೇಳುತ್ತಿದ್ದೇನೆ. ನಾನು ಕೊಡುವ ಆಜ್ಞೆ ಏನೆಂದರೆ: ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಗೆಳೆಯರಿಗಾಗಿ ತನ್ನ ಪ್ರಾಣವನ್ನೇ ಧಾರೆಯೆರೆಯುವ ಪ್ರೀತಿಗಿಂತ ಮಿಗಿಲಾದ ಪ್ರೀತಿ ಯಾರಲ್ಲೂ ಇಲ್ಲ. ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು. ನಾನಿನ್ನು ನಿಮ್ಮನ್ನು ದಾಸರೆಂದು ಕರೆಯುವುದಿಲ್ಲ. ಧಣಿಯ ಕೆಲಸಕಾರ್ಯಗಳು ದಾಸನಿಗೆ ತಿಳಿಯವು. ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ. ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು. ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆ."