12.10.22 - "ಪ್ರಾರ್ಥನಾ ಮಂದಿರಗಳಲ್ಲಿ ಪ್ರಧಾನ ಆಸನಗಳನ್ನೂ ಪೇಟೆಬೀದಿಗಳಲ್ಲಿ ವಂದನೋಪಚಾರಗಳನ್ನೂ ಅಪೇಕ್ಷಿಸುತ್ತೀರಿ"

ಮೊದಲನೇ ವಾಚನ: ಗಲಾತ್ಯರಿಗೆ 5:18-25

ಸಹೋದರರೇ, ನೀವು ಪವಿತ್ರಾತ್ಮ ನಡೆಸುವ ಮಾರ್ಗದಲ್ಲಿ ನಡೆಯುವವರಾದರೆ, ಧರ್ಮಶಾಸ್ತ್ರದ ವಿಧಿನಿಯಮಗಳಿಗೆ ನೀವು ಅಧೀನರಲ್ಲ. ದೈಹಿಕ ವ್ಯಾಮೋಹದ ದುಷ್ಪರಿಣಾಮಗಳು ತಿಳಿದೇ ಇವೆ: ಹಾದರ, ಅಶುದ್ಧತೆ, ಕಾಮುಕತನ, ವಿಗ್ರಹಾರಾಧನೆ, ಮಾಟಮಂತ್ರ, ಹಗೆತನ, ಜಗಳ, ಹೊಟ್ಟೆಕಿಚ್ಚು, ಕ್ರೋಧ, ಸ್ವಾರ್ಥಭೇದ, ಪಕ್ಷಪಾತ, ಮತ್ಸರ, ಕುಡಿಕತನ, ದುಂದೌತಣ - ಇತ್ಯಾದಿಗಳು. ಇಂಥ ಕೃತ್ಯಗಳನ್ನು ಮಾಡುವವರು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ ಎಂದು ಈಗಾಗಲೇ ನಿಮ್ಮನ್ನು ಎಚ್ಚರಿಸಿದ್ದೇನೆ; ಈಗಲೂ ಎಚ್ಚರಿಸುತ್ತೇನೆ. ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ. ಇವುಗಳನ್ನು ಯಾವ ಧರ್ಮಶಾಸ್ತ್ರವೂ ಆಕ್ಷೇಪಿಸುವುದಿಲ್ಲ. ಕ್ರಿಸ್ತಯೇಸುವಿಗೆ ಸೇರಿದ ಎಲ್ಲರೂ ತಮ್ಮ ದೈಹಿಕ ವ್ಯಾಮೋಹವನ್ನು ಅದರ ಆಶಾಪಾಶಗಳ ಹಾಗೂ ದುರಿಚ್ಛೆಗಳ ಸಮೇತ ಶಿಲುಬೆಗೆ ಜಡಿದುಬಿಟ್ಟಿದ್ದಾರೆ. ಪವಿತ್ರಾತ್ಮ ನಮ್ಮ ಜೀವಾಳವಾಗಿದ್ದರೆ, ಅವರೇ ನಮ್ಮ ಜೀವನದ ಮಾರ್ಗದರ್ಶಿಯೂ ಆಗಿರಬೇಕು.

ಕೀರ್ತನೆ: 1:1-2, 3, 4, 6

ಶ್ಲೋಕ: ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. 

ಶುಭಸಂದೇಶ: ಲೂಕ 11:42-46

ಯೇಸುಸ್ವಾಮಿ ಫರಿಸಾಯರನ್ನುದ್ದೇಶಿಸಿ ಹೀಗೆಂದರು: “ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದಿನ, ಸದಾಪು ಮುಂತಾದ ಪಲ್ಯಗಳಲ್ಲೂ ಹತ್ತರಲ್ಲಿ ಒಂದು ಪಾಲು ಸಲ್ಲಿಸುತ್ತೀರಿ, ಸರಿ. ಆದರೆ ನ್ಯಾಯನೀತಿಯನ್ನೂ ದೇವರ ಪ್ರೀತಿಯನ್ನೂ ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡದೆ, ಇವುಗಳನ್ನು ಅನುಷ್ಠಾನಕ್ಕೆ ತರಬೇಕಾಗಿತ್ತು. “ಫರಿಸಾಯರೇ ನಿಮಗೆ ಧಿಕ್ಕಾರ! ಪ್ರಾರ್ಥನಾ ಮಂದಿರಗಳಲ್ಲಿ ಪ್ರಧಾನ ಆಸನಗಳನ್ನೂ ಪೇಟೆಬೀದಿಗಳಲ್ಲಿ ವಂದನೋಪಚಾರಗಳನ್ನೂ ಅಪೇಕ್ಷಿಸುತ್ತೀರಿ. ಅಯ್ಯೋ, ನಿಮಗೆ ಧಿಕ್ಕಾರ! ನೀವು ನೆಲಸಮವಾದ ಸಮಾಧಿಗಳಂತೆ ಇದ್ದೀರಿ. ಸಮಾಧಿಗಳೆಂದು ತಿಳಿಯದೆಯೆ ಜನರು ಅವುಗಳ ಮೇಲೆ ನಡೆದಾಡುತ್ತಾರೆ,” ಎಂದರು. ಇದನ್ನು ಕೇಳಿದ ಒಬ್ಬ ಧರ್ಮಶಾಸ್ತ್ರಜ್ಞನು, “ಬೋಧಕರೇ, ನೀವು ಹೀಗೆ ಮಾತನಾಡುವುದರಿಂದ ನಮ್ಮನ್ನೂ ಖಂಡಿಸಿದಂತಾಯಿತು,” ಎಂದನು. ಅದಕ್ಕೆ ಯೇಸು, “ಶಾಸ್ತ್ರಜ್ಞರೇ, ನಿಮಗೂ ಧಿಕ್ಕಾರ! ಹೊರಲಾಗದ ಹೊರೆಗಳನ್ನು ನೀವು ಜನರ ಮೇಲೆ ಹೇರುತ್ತೀರಿ; ನೀವಾದರೋ ನಿಮ್ಮ ಕಿರುಬೆರಳಿನಿಂದ ಕೂಡ ಅವುಗಳನ್ನು ಮುಟ್ಟುವುದಿಲ್ಲ," ಎಂದರು. 

11.10.22 - ನಿಮ್ಮ ತಟ್ಟೆ, ಲೋಟಗಳಲ್ಲಿ ಇರುವುದನ್ನು ಮೊಟ್ಟಮೊದಲು ದಾನಮಾಡಿರಿ. ಆಗ ಸಮಸ್ತವು ನಿಮಗೆ ಶುದ್ಧಿಯಾಗಿರುವುದು.

 ಮೊದಲನೇ ವಾಚನ: ಗಲಾತ್ಯರಿಗೆ 5:1-6


ಹೌದು ಪ್ರಿಯ ಸಹೋದರರೇ, ನಾವು ಮುಕ್ತ ಸ್ವಾತಂತ್ರ್ಯದಿಂದ ಬಾಳಬೇಕೆಂದು ಕ್ರಿಸ್ತಯೇಸು ನಮ್ಮನ್ನು ಬಿಡುಗಡೆಮಾಡಿದರು. ಆದ್ದರಿಂದ ದೃಢವಾಗಿರಿ. ಗುಲಾಮಗಿರಿಯ ನೊಗಕ್ಕೆ ಪುನಃ ಕೊರಳನ್ನು ಒಡ್ಡದಿರಿ. ಪೌಲನಾದ ನಾನು ಹೇಳುವುದನ್ನು ಕೇಳಿ: ನೀವು ಸುನ್ನತಿ ಮಾಡಿಸಿಕೊಂಡರೆ ಕ್ರಿಸ್ತಯೇಸುವಿನಿಂದ ನಿಮಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಸುನ್ನತಿಮಾಡಿಸಿಕೊಳ್ಳುವ ಪ್ರತಿಯೊಬ್ಬನೂ ಇಡೀ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಲು ಬದ್ಧನಾಗಿದ್ದಾನೆ ಎಂದು ಪುನಃ ನಿಮಗೆ ನಾನು ಒತ್ತಿ ಹೇಳುತ್ತೇನೆ. ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರ ಮೂಲಕವೇ ದೇವರೊಡನೆ ಸತ್ಸಂಬಂಧ ಪಡೆಯಬೇಕೆಂದಿರುವ ನೀವು ಕ್ರಿಸ್ತಯೇಸುವಿನಿಂದ ಬೇರ್ಪಟ್ಟಿದ್ದೀರಿ. ದೈವಾನುಗ್ರಹದಿಂದ ದೂರವಾಗಿದ್ದೀರಿ. ನಾವಾದರೋ ಪವಿತ್ರಾತ್ಮರ ಮುಖಾಂತರ ವಿಶ್ವಾಸದಿಂದ ದೇವರೊಂದಿಗೆ ಸತ್ಸಂಬಂಧವನ್ನು ಹೊಂದುತ್ತೇವೆಂಬ ನಿರೀಕ್ಷೆ ಉಳ್ಳವರಾಗಿದ್ದೇವೆ; ಈ ನಿರೀಕ್ಷೆ ಸಫಲವಾಗುವುದನ್ನು ಎದುರುನೋಡುತ್ತಿದ್ದೇವೆ. ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.

ಕೀರ್ತನೆ: 119:41, 43, 44, 45, 47, 48

ಶ್ಲೋಕ: ದೊರಕಲಿ ಪ್ರಭೂ ನನಗೆ, ನಿನ್ನ ಕರುಣೆ. 

ಶುಭಸಂದೇಶ: ಲೂಕ 11:37-41


ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಗಿಸಿದಾಗ, ಫರಿಸಾಯನೊಬ್ಬನು ಅವರನ್ನು ಊಟಕ್ಕೆ ಆಮಂತ್ರಿಸಿದನು. ಯೇಸು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡರು. ಊಟಕ್ಕೆ ಮುಂಚೆ ಅವರು ಕೈ ತೊಳೆಯದೆಹೋದುದನ್ನು ಕಂಡು ಫರಿಸಾಯನು ಚಕಿತನಾದನು. ಆಗ ಯೇಸು, “ಫರಿಸಾಯರಾದ ನೀವು ಲೋಟ ಹಾಗೂ ಊಟದ ತಟ್ಟೆಗಳ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಲೋಭದಿಂದಲೂ ಕೆಡುಕಿನಿಂದಲೂ ತುಂಬಿದೆ. ಮೂರ್ಖರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಲಿಲ್ಲವೇ? ನಿಮ್ಮ ತಟ್ಟೆ, ಲೋಟಗಳಲ್ಲಿ ಇರುವುದನ್ನು ಮೊಟ್ಟಮೊದಲು ದಾನಮಾಡಿರಿ. ಆಗ ಸಮಸ್ತವು ನಿಮಗೆ ಶುದ್ಧಿಯಾಗಿರುವುದು.

10.10.22 - "ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ."

ಮೊದಲನೇ ವಾಚನ: ಗಲಾತ್ಯರಿಗೆ4:22-24, 26-27, 31--5:1

ಸಹೋದರರೇ, ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು: ಒಬ್ಬನು ದಾಸಿಯಿಂದ ಹುಟ್ಟಿದವನು; ಇನ್ನೊಬ್ಬನು ಧರ್ಮಪತ್ನಿಯಿಂದ ಹುಟ್ಟಿದವನು. ದಾಸಿಯ ಮಗ ಪ್ರಕೃತಿ ಸಹಜವಾಗಿ ಹುಟ್ಟಿದವನು; ಧರ್ಮಪತ್ನಿಯ ಮಗನಾದರೋ ವಾಗ್ದಾನದ ಫಲವಾಗಿ ಹುಟ್ಟಿದವನು. ಇದೊಂದು ಅಲಂಕಾರ ರೂಪ. ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳಿಗೆ ಸದೃಶರಾಗಿದ್ದಾರೆ. ಒಂದು, ಸೀನಾಯ್ ಪರ್ವತದಲ್ಲಿ ಮಾಡಲಾದ ಒಡಂಬಡಿಕೆ; ಅದು ದಾಸತ್ವಕ್ಕೆ ಮಕ್ಕಳನ್ನು ಹೆರುತ್ತದೆ. ಅದನ್ನು ಸೂಚಿಸುವವಳೇ ದಾಸಿ ಹಾಗರಳು. ಆದರೆ ಸ್ವರ್ಗೀಯ ಜೆರುಸಲೇಮ್ ದಾಸಿ ಅಲ್ಲ, ಸ್ವತಂತ್ರಳು, ಈಕೆಯೇ ನಮ್ಮ ತಾಯಿ. “ಸಂತಾನವಿಲ್ಲದ ಸ್ತ್ರೀಯೇ, ಸಂತೋಷಿಸು ಪ್ರಸವವೇದನೆಯನರಿಯದವಳೇ, ಹರ್ಷೋದ್ಗಾರಮಾಡು ಗಂಡನುಳ್ಳವಳಿಗಿಂತ ಕೈಬಿಟ್ಟವಳ ಸಂತಾನ ಹೆಚ್ಚು.” ಎಂದು ಪವಿತ್ರಗ್ರಂಥದಲ್ಲೇ ಲಿಖಿತವಾಗಿದೆ. ಹೌದು, ಪ್ರಿಯ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಧರ್ಮಪತ್ನಿಯ ಮಕ್ಕಳು. ನಾವು ಮುಕ್ತ ಸ್ವಾತಂತ್ರ್ಯದಿಂದ ಬಾಳಬೇಕೆಂದು ಕ್ರಿಸ್ತಯೇಸು ನಮ್ಮನ್ನು ಬಿಡುಗಡೆಮಾಡಿದರು. ಆದ್ದರಿಂದ ದೃಢವಾಗಿರಿ. ಗುಲಾಮಗಿರಿಯ ನೊಗಕ್ಕೆ ಪುನಃ ಕೊರಳನ್ನು ಒಡ್ಡದಿರಿ.

ಕೀರ್ತನೆ: 113:1-2, 3-4, 5, 6-7

ಶ್ಲೋಕ: ಪ್ರಭುವಿನ ಸಿರಿನಾಮವು ಇಂದಿಗೂ ಎಂದೆಂದಿಗೂ ಪೂಜ್ಯ. 

ಶುಭಸಂದೇಶ: ಲೂಕ 11:29-32


ಜನರ ಗುಂಪು ಹೆಚ್ಚುತ್ತಿದ್ದಾಗ, ಯೇಸುಸ್ವಾಮಿ ಹೀಗೆಂದು ಮುಂದುವರಿಸಿದರು: “ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು.  ಹೇಗೆಂದರೆ, ನಿನೆವೆ ನಗರದ ಜನರಿಗೆ ಪ್ರವಾದಿ ಯೋನನು ಸಂಕೇತವಾದಂತೆ ನರಪುತ್ರನು ಈ ಸಂತತಿಗೆ ಸಂಕೇತವಾಗಿರುವನು. “ದೈವತೀರ್ಪಿನ ದಿನ ದಕ್ಷಿಣದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತುಕೊಂಡು, ಇವರನ್ನು ಅಪರಾಧಿಗಳೆಂದು ತೋರಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೇಶದ ಕಟ್ಟಕಡೆಯಿಂದ ಬಂದಳು. ಆದರೆ, ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.  ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿ ಎಂದು ತೋರಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ."

09.10.22 - "ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ"

ಮೊದಲನೇ ವಾಚನ: 2 ಅರಸರು 5:14-17 

ಎಲೀಷನು ಹೇಳಿದಂತಯೇ ನಾಮಾನನು ಜೋರ್ಡಾನಿಗೆ ಹೋಗಿ, ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೈವಪುರುಷನ ಮಾತಿಗನುಸಾರ ಅವನ ದೇಹ ಒಂದು ಮಗುವಿನ ದೇಹದಂತೆ ಶುದ್ಧವಾಯಿತು. ಆನಂತರ ನಾಮಾನನು ತನ್ನ ಪರಿವಾರದವರೊಡನೆ ಹಿಂದಿರುಗಿ ದೈವಪುರುಷನ ಬಳಿಗೆ ಹೋಗಿ ಅವನ ಮುಂದೆ ನಿಂತನು. "ಇಸ್ರಯೇಲ್ ನಾಡಿನಲ್ಲಿರುವ ದೇವರ ಹೊರತು, ಲೋಕದಲ್ಲಿ ಬೇರೆ ದೇವರು ಇಲ್ಲವೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು; ತಾವು ದಯವಿಟ್ಟು ಈ ಕಾಣಿಕೆಯನ್ನು ಅಂಗೀಕರಿಸಬೇಕು," ಎಂದು ಹೇಳಿದನು. ಅದಕ್ಕೆ ಎಲೀಷನು, "ನಾನು ಸನ್ನಿಧಿ ಸೇವೆ ಮಾಡುತ್ತಿರುವ ಸರ್ವೇಶ್ವರನಾಣೆ, ನಿನ್ನಿಂದ ಏನೂ ತೆಗೆದುಕೊಳ್ಳುವುದಿಲ್ಲ," ಎಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ತೆಗೆದುಕೊಳ್ಳಲೇ ಇಲ್ಲ. ಆಗ ಅವನು ಎಲೀಷನಿಗೆ, "ತಾವು ನನ್ನಿಂದ ಏನನ್ನೂ ಸ್ವೀಕರಿಸದಿದ್ದರೆ ತಮ್ಮ ಸೇವಕನಾದ ನನಗೆ ಎರಡು ಹೇಸರುಕತ್ತೆಗಳು ಹೊರುವಷ್ಟು ಮಣ್ಣನ್ನು ಕೂಡಿಸಬೇಕೆಂದು ಬೇಡಿಕೊಳ್ಳುತ್ತೇನೆ. ನಾನು ಇನ್ನು ಮುಂದೆ ಎಲ್ಲಾ ದೇವತೆಗಳನ್ನು ಬಿಟ್ಟು ಸರ್ವೇಶ್ವರಸ್ವಾಮಿಯೊಬ್ಬರಿಗೇ  ದಹನಬಲಿಗಳನ್ನು ಸಮರ್ಪಿಸಬೇಕೆಂದಿರುತ್ತೇನೆ," ಎಂದು ಹೇಳಿದನು. 

ಕೀರ್ತನೆ: 98:1, 2-3, 3-4 

ಶ್ಲೋಕ: ಪ್ರಕಟಿಹನು ಪ್ರಭು ತನ್ನ ಮುಕ್ತಿವಿಧಾನವನು 

ಎರಡನೇ ವಾಚನ: 2 ತಿಮೊಥೇಯನಿಗೆ  2:8-13 

ಪ್ರಿಯಪುತ್ರನೇ, ಕ್ರಿಸ್ತ ಯೆಸುವನ್ನು ಸ್ಮರಿಸಿಕೋ. ದಾವೀದನ ವಂಶಸ್ಥರಾದ ಅವರು ಮೃತರಾಗಿ ಪುನರುತ್ಥಾನರಾದರು. ಇದೇ ನಾನು ಸಾರುವ ಶುಭಸಂದೇಶ. ಇದನ್ನು ಸಾರಿದ್ದರಿಂದಲೇ ನಾನು ಕಷ್ಟಗಳಿಗೆ ಈಡಾಗಿದ್ದೇನೆ; ಪಾತಕಿಯಂತೆ ಬೇಡಿಕೆಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯವನ್ನು ಯಾರೂ ಬಂಧಿಸುವಂತಿಲ್ಲ. ದೇವರಿಂದ ಆಯ್ಕೆಯಾದ ಪ್ರಜೆಗಳು ಪ್ರಭು ಯೇಸುವಿನಲ್ಲಿ ಲಭಿಸುವ ಜೀವೋದ್ಧಾರವನ್ನೂ ಅನಂತ ಮಹಿಮೆಯನ್ನೂ ನನ್ನೊಂದಿಗೆ ಪಡೆಯಲೆಂದು ನಾನು ಇದೆಲ್ಲವನ್ನೂ ಅವರಿಗಾಗಿ  ಸಹಿಸುತ್ತಿದ್ದೇನೆ. ಈ ಮಾತು ನಂಬತಕ್ಕದ್ದಾಗಿದೆ: ನಾವು ಆತನೊಡನೆ ಸತ್ತಿದ್ದರೆ, ಆತನೊಡನೆ ಜೀವಿಸುತ್ತೇವೆ. ಸೈರಣೆಯುಳ್ಳವರು ನಾವಾದರೆ, ಆತನೊಡನೆ ರಾಜ್ಯವಾಳುತ್ತೇವೆ; ನಾವಾತನನು ನಿರಾಕರಿಸಿದರೆ ನಮ್ಮನಾತ ನಿರಾಕರಿಸುತ್ತಾನೆ. ನಾವು ವಿಶ್ವಾಸಭ್ರಷ್ಟರಾದರೂ ವಿಶ್ವಾಸಪಾತ್ರನಾತ; ಕಾರಣ,  ತನ್ನ ಸ್ವಭಾವಕ್ಕೆ ವಿರುದ್ಧ ವರ್ತಿಸನಾತ. 

ಶುಭಸಂದೇಶ: ಲೂಕ 17:11-19 


ಯೇಸುಸ್ವಾಮಿ ಜೆರುಸಲೇಮಿಗೆ ಪ್ರಯಾಣ ಮಾಡುತ್ತಾ ಸಮಾರಿಯ ಹಾಗೂ ಗಲಿಲೇಯ ಗಡಿಗಳ ನಡುವೆ ಹಾದುಹೋಗುತ್ತಿದ್ದರು. ಒಂದು ಗ್ರಾಮವನ್ನು ಸಮಿಾಪಿಸಿದಾಗ ಕುಷ್ಟರೋಗದಿಂದ ನರಳುತ್ತಿದ್ದ ಹತ್ತು ಮಂದಿ ಅವರಿಗೆ ಎದುರಾಗಿ ಬಂದರು. ದೂರದಲ್ಲೇ ನಿಂತು, "ಯೇಸುವೇ, ಗುರುವೇ, ನಮ್ಮ ಮೇಲೆ ಕರುಣೆಯಿಡಿ,' ಎಂದು ಕೂಗಿ ಕೇಳಿಕೊಂಡರು. ಯೇಸು ಅವರನ್ನು ನೋಡಿ, "ನೀವು ಯಾಜಕರ ಬಳಿಗೆ ಹೋಗಿರಿ, ಅವರು ನಿಮ್ಮನ್ನು ಪರೀಕ್ಷಿಸಲಿ," ಎಂದರು. ಅಂತೆಯೇ, ಅವರು ದಾರಿಯಲ್ಲಿ ಹೋಗುತ್ತಿರುವಾಗಲೇ ಗುಣಹೊಂದಿದರು. ಅವರಲ್ಲಿ ಒಬ್ಬನು ತಾನು ಗುಣಹೊಂದಿದ್ದನು ಕಂಡು, ಹರ್ಷೋದ್ಗಾರದಿಂದ ದೇವರನ್ನು ಸ್ತುತಿಸುತ್ತಾ ಹಿಂದಿರುಗಿ ಬಂದನು. ಯೇಸುವಿನ ಪಾದಕ್ಕೆ ಸಾಷ್ಟಾಂಗವೆರಗಿ ಕೃತಜ್ಞತೆಯನ್ನು ಸಲ್ಲಿಸಿದನು. ಇವನೋ ಸಮಾರಿಯದವನು! ಆಗ ಯೇಸು, "ಹತ್ತುಮಂದಿ ಗುಣ ಹೊಂದಿದರಲ್ಲವೇ? ಮಿಕ್ಕ ಒಂಭತ್ತು ಮಂದಿ ಎಲ್ಲಿ? ದೇವರನ್ನು ಸ್ತುತಿಸುವುದಕ್ಕೆ ಈ ಹೊರನಾಡಿನವನ ಹೊರತು ಬೇರಾರೂ ಬರಲಿಲ್ಲವೇ?" ಎಂದರು. ಆನಂತರ ಆ ಸಮಾರಿಯದವನಿಗೆ, "ಎದ್ದು ಹೋಗು: ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ," ಎಂದು ಹೇಳಿದರು.

08.10.22 - “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!”

ಮೊದಲನೇ ವಾಚನ: ಗಲಾತ್ಯರಿಗೆ 3:22-29

ಸಹೋದರರೇ, ಸಮಸ್ತ ಲೋಕವೂ ಪಾಪಕ್ಕೆ ಒಳಗಾಯಿತು ಎಂದು ಪವಿತ್ರಗ್ರಂಥ ಸ್ಪಷ್ಟೀಕರಿಸುತ್ತದೆ. ಹೀಗೆ, ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸುಕ್ರಿಸ್ತರಲ್ಲಿ ವಿಶ್ವಾಸವಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ. ಕ್ರೈಸ್ತವಿಶ್ವಾಸದ ಕಾಲವು ಬರುವುದಕ್ಕೆ ಮೊದಲು ನಾವು ಧರ್ಮಶಾಸ್ತ್ರದ ನಿರ್ಬಂಧಕ್ಕೆ ಒಳಗಾಗಿ ಕೈದಿಗಳಂತೆ ಇದ್ದೆವು. ಈ ವಿಶ್ವಾಸವು ಪ್ರಕಟವಾಗುವವರೆಗೂ ಇದೇ ಪರಿಸ್ಥಿತಿ ಇತ್ತು. ಅಂತೆಯೇ, ವಿಶ್ವಾಸದ ಮೂಲಕ ನಾವು ದೇವರೊಡನೆ ಸತ್ಸಂಬಂಧ ಹೊಂದುವಂತೆ ಕ್ರಿಸ್ತಯೇಸು ಬರುವತನಕ ಅದು ನಮಗೆ ಕಾವಲಾಗಿತ್ತು. ಈಗ ಕ್ರೈಸ್ತವಿಶ್ವಾಸವು ಆಗಮಿಸಿರುವುದರಿಂದ ಇನ್ನು ನಾವು ಧರ್ಮಶಾಸ್ತ್ರದ ಅಧೀನದಲ್ಲಿ ಇಲ್ಲ. ಕ್ರಿಸ್ತಯೇಸುವಿನಲ್ಲಿ ಇಟ್ಟಿರುವ ವಿಶ್ವಾಸದ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರಿ. ಹೇಗೆಂದರೆ, ಕ್ರಿಸ್ತಯೇಸುವಿನಲ್ಲಿ ಒಂದಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತಂಬರರಾಗಿದ್ದೀರಿ. ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ. ನೀವು ಕ್ರಿಸ್ತಯೇಸುವಿಗೆ ಸೇರಿದವರಾಗಿದ್ದರೆ ಅಬ್ರಹಾಮನ ಸಂತತಿಯೂ ಆಗಿದ್ದೀರಿ; ದೈವವಾಗ್ದಾನದ ಪ್ರಕಾರ ವಾರಸುದಾರರೂ ಆಗಿದ್ದೀರಿ.

ಕೀರ್ತನೆ: 105:2-3, 4-5, 6-7

ಶ್ಲೋಕ: ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು 

ಶುಭಸಂದೇಶ: ಲೂಕ 11:27-28


ಯೇಸುಸ್ವಾಮಿ ಮಾತನಾಡುತ್ತಿದ್ದಾಗ ಜನಸಮೂಹದಿಂದ ಮಹಿಳೆಯೊಬ್ಬಳು, “ನಿಮ್ಮನ್ನು ಉದರದಲ್ಲಿ ಹೊತ್ತು, ನಿಮಗೆ ಮೊಲೆಯೂಡಿಸಿದ ತಾಯಿ ಭಾಗ್ಯವಂತಳು!” ಎಂದು ಕೂಗಿ ಹೇಳಿದಳು. ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.

07.10.22 - "ನಾನು ದೇವರ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ದೇವರ ಸಾಮ್ರಾಜ್ಯ ನಿಮ್ಮಲ್ಲಿಗೆ ಈಗಾಗಲೇ ಬಂದಿದೆ"

ಮೊದಲನೇ ವಾಚನ: ಗಲಾತ್ಯರಿಗೆ 3:7-14

ಸಹೋದರರೇ, ಯಾರು ವಿಶ್ವಾಸದಿಂದ ಜೀವಿಸುತ್ತಾರೋ ಅವರೇ ಅಬ್ರಹಾಮನ ಮಕ್ಕಳೆಂದು ತಿಳಿದುಕೊಳ್ಳಿ. ಈ ವಿಶ್ವಾಸದ ಮೂಲಕವೇ ಅನ್ಯಧರ್ಮೀಯರನ್ನು ಕೂಡ ದೇವರು ತಮ್ಮ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ, ಎಂದು ಪವಿತ್ರಗ್ರಂಥದಲ್ಲಿ ಮೊದಲೇ ಬರೆಯಲಾಗಿತ್ತು. ಈ ಕಾರಣದಿಂದಲೇ ಅಬ್ರಹಾಮನಿಗೆ, “ನಿನ್ನ ಮುಖಾಂತರವೇ ಎಲ್ಲಾ ಜನಾಂಗಗಳು ಆಶೀರ್ವಾದವನ್ನು ಪಡೆಯುವುವು,” ಎಂಬ ಶುಭವರ್ತಮಾನವನ್ನು ಪಡೆಯುವುವು,” ಎಂಬ ಶುಭವರ್ತಮಾನವನ್ನು ಮುಂಚಿತವಾಗಿ ತಿಳಿಸಲಾಯಿತು. ಹೀಗಿರಲಾಗಿ, ವಿಶ್ವಾಸದಿಂದ ಬಾಳುವವರು ವಿಶ್ವಾಸಿಯಾದ ಅಬ್ರಹಾಮನು ಪಡೆದ ಸೌಭಾಗ್ಯವನ್ನೇ ಪಡೆಯುವರು. ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ. ಇದಲ್ಲದೆ, ಧರ್ಮಶಾಸ್ತ್ರ ವಿಧಿಸುವುದನ್ನು ಪೂರೈಸುವುದರಿಂದ ಯಾರೂ ದೇವರೊಡನೆ ಸತ್ಸಂಬಂಧ ಪಡೆಯಲಾರರು ಎಂಬುದು ಸಹ ಸ್ಪಷ್ಟವಾಗಿದೆ. ಏಕೆಂದರೆ, “ಯಾರು ದೇವರೊಡನೆ ಸತ್ಸಂಬಂಧವನ್ನು ಹೊಂದಿರುತ್ತಾರೋ ಅವರು ವಿಶ್ವಾಸದಿಂದಲೇ ಸಜ್ಜೀವವನ್ನು ಪಡೆಯುತ್ತಾರೆ” ಎಂದು ಪವಿತ್ರಗ್ರಂಥದಲ್ಲೇ ಲಿಖಿತವಾಗಿದೆ. ಧರ್ಮಶಾಸ್ತ್ರ ವಿಶ್ವಾಸವನ್ನು ಆಧರಿಸಿಲ್ಲ, ಬದಲಿಗೆ, “ಅದರ ವಿಧಿನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕವಾಗಿ ಜೀವಿಸುತ್ತಾನೆ,” ಎಂದು ಬರೆಯಲಾಗಿದೆ. ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು. ಇದರಿಂದಾಗಿ ಅಬ್ರಹಾಮನಿಗೆ ದೊರಕಿದ ಸೌಭಾಗ್ಯ, ಕ್ರಿಸ್ತಯೇಸುವಿನ ಮುಖಾಂತರ ಅನ್ಯಧರ್ಮೀಯರಿಗೂ ದೊರಕುವಂತಾಯಿತು; ವಿಶ್ವಾಸದ ಮೂಲಕವಾಗಿ, ದೇವರು ವಾಗ್ದಾನ ಮಾಡಿದ ಪವಿತ್ರಾತ್ಮ ನಮಗೂ ದೊರಕುವಂತಾಯಿತು.

ಕೀರ್ತನೆ: 111:1-2, 3-4, 5-6

ಶ್ಲೋಕ: ತನ್ನೊಡಂಬಡಿಕೆಯ ಚಿರ ನೆನಪಿರುವುದು ಪ್ರಭುವಿಗೆ 

ಶುಭಸಂದೇಶ: ಲೂಕ 11:15-26


ಜನರಲ್ಲಿ ಕೆಲವರು, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ,” ಎಂದರು. ಬೇರೆ ಕೆಲವರು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ಸ್ವರ್ಗದಿಂದ ಒಂದು ಅದ್ಭುತಕಾರ್ಯವನ್ನು ಮಾಡಿತೋರಿಸುವಂತೆ ಕೇಳಿದರು. ಅವರ ಆಲೋಚನೆಗಳನ್ನು ಅರಿತುಕೊಂಡು ಯೇಸು, “ಅಂತಃಕಲಹದಿಂದ ಒಡೆದು ಹೋಗಿರುವ ಪ್ರತಿಯೊಂದು ರಾಜ್ಯ ನಾಶವಾಗುವುದು; ಕುಟುಂಬ ಕುಟುಂಬಗಳು ಕಚ್ಚಾಡಿ ಹಾಳಾಗುವುವು. ಅಂತೆಯೇ ಸೈತಾನನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯ ಹೇಗೆ ತಾನೆ ಉಳಿದೀತು? ನಾನು ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಶಕ್ತಿಯಿಂದ ಬಿಡಿಸುತ್ತಾರೆ? ಆದ್ದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು. ನಾನು ದೇವರ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ದೇವರ ಸಾಮ್ರಾಜ್ಯ ನಿಮ್ಮಲ್ಲಿಗೆ ಈಗಾಗಲೇ ಬಂದಿದೆ, ಎಂಬುದು ಸ್ಪಷ್ಟ. “ಬಲಿಷ್ಠನೊಬ್ಬನು ಸರ್ವಾಯುಧಗಳಿಂದ ಸುಸಜ್ಜಿತನಾಗಿ ತನ್ನ ಮನೆಗೆ ಕಾವಲಿರುವಾಗ ಅವನ ಆಸ್ತಿಯೆಲ್ಲ ಸುರಕ್ಷಿತವಾಗಿರುತ್ತದೆ. ಆದರೆ ಇವನಿಗಿಂತಲೂ ಬಲಿಷ್ಠನು ಎದುರಿಸಿ ಬಂದು ಇವನನ್ನು ಗೆದ್ದಾಗ, ಇವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಯನ್ನು ಹಂಚಿಕೊಡುತ್ತಾನೆ. “ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ,” ಎಂದರು. ಯೇಸುಸ್ವಾಮಿ ಬೋಧನೆಯನ್ನು ಮುಂದುವರಿಸುತ್ತಾ, “ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ತೊಲಗಿದ ಮೇಲೆ ನೆಲೆಯನ್ನು ಹುಡುಕುತ್ತಾ ಒಣಗಾಡಿನಲ್ಲಿ ಅಲೆದಾಡುತ್ತದೆ. ಅದಕ್ಕೆ ನೆಲೆ ಸಿಗದ ಕಾರಣ ಅದು, ‘ನಾನು ಬಿಟ್ಟುಬಂದ ನನ್ನ ಮನೆಗೇ ಹಿಂದಿರುಗುತ್ತೇನೆ’ ಎಂದುಕೊಳ್ಳುತ್ತದೆ. ಅದು ಮರಳಿ ಬಂದಾಗ, ಮನೆ ಗುಡಿಸಿರುವುದನ್ನೂ ಎಲ್ಲವೂ ಚೊಕ್ಕಟವಾಗಿರುವುದನ್ನೂ ಕಾಣುತ್ತದೆ. ಪುನಃ ಹೊರಟು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳ ಹೊಕ್ಕು ನೆಲಸುತ್ತವೆ. ಕೊನೆಗೆ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗೆ ಇಳಿಯುತ್ತದೆ,” ಎಂದರು.

06.10.22 - "ಯಾವ ತಂದೆ ತಾನೇ ತನ್ನ ಮಗ ಮೀನನ್ನು ಕೇಳಿದರೆ ಹಾವನ್ನು ಕೊಡುತ್ತಾನೆ? "

 ಮೊದಲನೇ ವಾಚನ: ಗಲಾತ್ಯರಿಗೆ 3:1-5

ಎಲೈ ಮತಿಗೆಟ್ಟ ಗಲಾತಿಯರೇ, ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸುಕ್ರಿಸ್ತರು ಶಿಲುಬೆಯ ಮೇಲೆ ಪ್ರಾಣಾರ್ಪಣೆ ಮಾಡಿದ್ದನ್ನು ನಿಮ್ಮ ಕಣ್ಣೆದುರಿಗೇ ಚಿತ್ರಿತಗೊಳಿಸಲಿಲ್ಲವೆ? ನಿಮ್ಮ ಬಳಿ ಒಂದು ವಿಷಯವನ್ನು ಕೇಳಲಿಚ್ಛಿಸುತ್ತೇನೆ; ನೀವು ಪವಿತ್ರಾತ್ಮರನ್ನು ಪಡೆದುದು ಹೇಗೆ? ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲೋ? ಇಲ್ಲವೆ ಶುಭಸಂದೇಶವನ್ನು ಕೇಳಿ ವಿಶ್ವಾಸಿಸಿದ್ದರಿಂದಲೋ? ನೀವು ಪವಿತ್ರಾತ್ಮ ಸಂಬಂಧವಾದ ಆಧ್ಯಾತ್ಮಿಕ ಜೀವನವನ್ನು ಪ್ರಾರಂಭಿಸಿಯೂ ಈಗ ಅದನ್ನು ಕೇವಲ ದೇಹಸಂಬಂಧವಾದ ವಿಧಿಯಿಂದ ಪೂರೈಸಬೇಕೆಂದಿದ್ದೀರೋ? ನೀವು ಅಷ್ಟು ಮತಿಗೆಟ್ಟವರೋ? ನಿಮ್ಮ ಅನುಭವಗಳೆಲ್ಲವೂ ವ್ಯರ್ಥವಾದುವು ಎಂದು ಹೇಳೋಣವೇ? ದೇವರು ನಿಮಗೆ ಪವಿತ್ರಾತ್ಮರನ್ನು ಪ್ರಧಾನಮಾಡಿ ಮಹತ್ಕಾರ್ಯಗಳನ್ನು ಎಸಗುತ್ತಾ ಬಂದಿದ್ದಾರೆ. ಹಾಗೆ ಮಾಡುತ್ತಿರುವುದು, ನೀವು ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲ್ಲ, ಶುಭಸಂದೇಶವನ್ನು ಕೇಳಿ, ವಿಶ್ವಾಸ ಇಟ್ಟಿರುವುದರಿಂದ.

ಲೂಕ: 1:69-70, 71-72, 73-75

ಶ್ಲೋಕ: ಸ್ತುತಿಸ್ತೋತ್ರ ಇಸ್ರಯೇಲಿನ  ದೇವರಾದ ಸರ್ವೇಶ್ವರನಿಗೆ 

ಶುಭಸಂದೇಶ: ಲೂಕ 11:5-13


ಯೇಸುಸ್ವಾಮಿ ಶಿಷ್ಯರಿಗೆ ಹೀಗೆಂದರು: “ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ: ಅವನು, ‘ಗೆಳೆಯಾ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು. ಪ್ರಯಾಣದಲ್ಲಿದ್ದ ನನ್ನ ಸ್ನೇಹಿತನೊಬ್ಬನು ಅನಿರೀಕ್ಷಿತವಾಗಿ ನನ್ನ ಮನೆಗೆ ಈಗತಾನೆ ಬಂದಿದ್ದಾನೆ. ಅವನಿಗೆ ಊಟಕ್ಕಿಡಲು ನನ್ನಲ್ಲಿ ಏನೂ ಇಲ್ಲ,’ ಎಂದು ಕೇಳಲು, ಈ ಸ್ನೇಹಿತ ಒಳಗಿನಿಂದಲೇ, ‘ನನಗೆ ತೊಂದರೆ ಕೊಡಬೇಡ; ಬಾಗಿಲು ಹಾಕಿ ಆಗಿದೆ; ನನ್ನ ಮಕ್ಕಳು ನನ್ನ ಕೂಡ ಮಲಗಿದ್ದಾರೆ; ನಾನು ಎದ್ದು ಬಂದು ಕೊಡುವುದಕ್ಕಾಗುವುದಿಲ್ಲ,’ ಎಂದು ಉತ್ತರ ಕೊಡುವುದು ಸಹಜವಲ್ಲವೇ? ಆದರೂ, ತನ್ನ ಗೆಳೆಯ ಇವನು ಎಂದು ಎದ್ದುಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದುಬಂದು ಕೇಳಿದಷ್ಟನ್ನು ಕೊಡುತ್ತಾನೆಂಬುದು ನಿಜ. ಆದುದರಿಂದ: ‘ಕೇಳಿರಿ, ನಿಮಗೆ ದೊರಕುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು. ಏಕೆಂದರೆ, ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ದೊರಕುವುದು; ಹುಡುಕುವವನಿಗೆ ಸಿಗುವುದು; ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು.’ “ನಿಮ್ಮಲ್ಲಿ ಯಾವ ತಂದೆ ತಾನೇ ತನ್ನ ಮಗ ಮೀನನ್ನು ಕೇಳಿದರೆ ಹಾವನ್ನು ಕೊಡುತ್ತಾನೆ?  ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುತ್ತಾನೆ?  ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.”

29.08.2026 - ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು

  ಸಂತ ಸ್ನಾನಿಕ ಯೊವಾನ್ನನ ಶಿರಚ್ಛೇದನ ಮೊದಲನೇ ವಾಚನ: ಯೆರೆಮಿಯ: 1: 17-19 ಆದುದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲ...