ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

17.08.2025 - "ನಾನು ಬಂದಿರುವುದು ಜಗತ್ತಿನಲ್ಲಿ ಬೆಂಕಿಯನ್ನು ಹೊತ್ತಿಸಲು"

 ಮೊದಲನೇ ವಾಚನ: ಯೆರೆಮೀಯ 38:4-6, 8-10


ಪದಾಧಿಕಾರಿಗಳು ಅರಸನ ಬಳಿಗೆ ಬಂದು, "ಒಡೆಯಾ, ಈ ಯೆರೆಮೀಯನಿಗೆ ಮರಣ ದಂಡನೆಯಾಗಬೇಕು. ಇವನು ನಗರದಲ್ಲಿರುವ ಸೈನಿಕರಿಗೂ ಇಂಥ ಭವಿಷ್ಯವನ್ನು ನುಡಿಯುತ್ತಾ  ಅವರು ಎದೆಗುಂದುವಂತೆ ಮಾಡುತ್ತಿದ್ದಾನೆ. ಅವನು ಹಾರೈಸುವುದು ಜನರ ಕ್ಷೇಮವನ್ನಲ್ಲ ಹಾನಿಯನ್ನೇ," ಎಂದು ದೂರಿತ್ತನು. ಅದಕ್ಕೆ ಅರಸ ಚಿದ್ಕೀಯನು, "ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ. ಅರಸನು ನಿಮಗೆ ಅಡ್ಡಬಂದು ಏನೂ ಮಾಡಬಲ್ಲವನಲ್ಲ," ಎಂದನು. ಅವರು ಯೆರೆಮೀಯನನ್ನು ಹಿಡಿದು   ಕಾರಾಗೃಹದ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದ ಇಳಿಸಿ ಅಲ್ಲೇ ಬಿಟ್ಟುಬಿಟ್ಟರು ಆ ಬಾವಿಯಲ್ಲಿ ನೀರಿರಲಿಲ್ಲ. ಕೆಸರಿತ್ತು. ಯೆರೆಮೀಯನು ಅದರೊಳಗೆ ಹೂತುಕೊಂಡನು. ಇದನ್ನು ತಿಳಿದುಕೊಂಡ ಅರಮನೆಯ ಕಂಚುಕಿಯು ಅರಮನೆಯಿಂದ ಹೊರಟು, ಬೆನ್ಯಾಮೀನಿನ ಬಾಗಿಲಿನಲ್ಲಿ ಕುಳಿತುಕೊಂಡಿದ್ದ ಅರಸನ ಬಳಿಗೆ ಬಂದು, "ನನ್ನೊಡೆಯಾ, ಅರಸರೇ, ಈ ಜನರು ಪ್ರವಾದಿ ಯೆರೆಮೀಯನಿಗೆ ಮಾಡಿರುವುದೆಲ್ಲಾ ದುಷ್ಟ ಕಾರ್ಯವೇ ಸರಿ. ಅವನನು ಬಾವಿಯಲ್ಲಿ ಹಾಕಿದ್ದಾರೆ. ಆಹಾರವಿಲ್ಲದೆ ಅವನು ಬಿದ್ದಲ್ಲೇ ಸಾಯುವುದು ಖಚಿತ. ಏಕೆಂದರೆ ನಗರದಲ್ಲಿ ರೊಟ್ಟಿಯಲ್ಲಾ ತೀರಿಹೋಗದೆ," ಎಂದು ಅರಿಕೆ ಮಾಡಿದನು . ಇದನ್ನು ಕೇಳಿದ ಅರಸನು ಸುಡಾನಿನ ಎಬೆದ್ಮೆಲೆಕನಿಗೆ, "ನೀನು ಇಲ್ಲಿಂದ ಮೂವತ್ತು ಮಂದಿ ಆಳುಗಳನ್ನು ಕರೆದುಕೊಂಡು ಹೋಗಿ ಪ್ರವಾದಿ ಯೆರೆಮೀಯನು ಸಾಯುವ ಮೊದಲೇ, ಅವನನ್ನು ಬಾವಿಯಿಂದ ಎತ್ತಿಸು," ಎಂದು ಅಪ್ಪಣೆಕೊಟ್ಟನು.

ಕೀರ್ತನೆ: 40:2, 3, 4, 18

ಶ್ಲೋಕ: ನನಗೊತ್ತಾಸೆ ಮಾಡಲು ಪ್ರಭೂ, ಬೇಗ ಬಾ

ಎರಡನೇ ವಾಚನ: ಹಿಬ್ರಿಯರಿಗೆ 12:1-4

ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು ಸ್ಥಿರಚಿತ್ತದಿಂದ ಭಾಗವಹಿಸೋಣ. ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ. ಪಾಪಿಗಳಿಂದ ತಮಗುಂಟಾದ ಕಠಿಣ ವಿರೋಧವನ್ನು ಯೇಸುಸ್ವಾಮಿ ಹೇಗೆ ಸಹಿಸಿಕೊಂಡರೆಂಬುದನ್ನು ಮನಸ್ಸಿನಲ್ಲಿಡಿ. ಆಗ ನೀವು ಬೇಸತ್ತು ಎದೆಗುಂದಲಾರಿರಿ.  ಪಾಪದ ವಿರುದ್ಧ ನೀವು ಕೈಗೊಂಡ ಹೋರಾಟದಲ್ಲಿ ನಿಮ್ಮ ರಕ್ತವನ್ನೇ ಸುರಿಸುವ ಸ್ಥಿತಿಗೆ ನೀವಿನ್ನೂ ಬಂದಿಲ್ಲ.

 ಶುಭಸಂದೇಶ: ಲೂಕ 12:49-53


ಯೇಸು ತಮ್ಮ ಶಿಷ್ಯರಿಗೆ ಹೇಳಿದ್ದೇನೆಂದರೆ, "ನಾನು ಬಂದಿರುವುದು ಜಗತ್ತಿನಲ್ಲಿ ಬೆಂಕಿಯನ್ನು ಹೊತ್ತಿಸಲು. ಅದು ಈಗಾಗಲೇ ಉರಿಯುತ್ತಿರಬೇಕೆಂಬುದೇ ನನ್ನ ಬಯಕೆ. ಆದರೆ ನಾನು ಪಡೆಯಬೇಕಾದ ಶ್ರಮಾಸ್ನಾನ ಒಂದುಂಟು. ಅದು ಈಡೇರುವ ತನಕನನಗೆ ನೆಮ್ಮದಿಯಿಲ್ಲ. ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆ ಎಂದು ಭಾವಿಸುತ್ತೀರೋ? ಇಲ್ಲ. ಭಿನ್ನಭೇದಗಳನ್ನು ಉಂಟುಮಾಡಲು ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ. ಹೇಗೆಂದರೆ, ಒಂದೇ ಮನೆಯಲ್ಲಿರುವ ಐವರಲ್ಲಿ,  ಇಬ್ಬರಿಗೆ ವಿರುದ್ಧ ಮೂವರು ಮೂವರಿಗೆ ವಿರುದ್ಧ ಇಬ್ಬರು ವಿಭಾಗವಾಗುವರು. ಮಗನಿಗೆ ವಿರುದ್ಧವಾಗಿ ತಂದೆ, ಮಗಳಿಗೆ, ವಿರುದ್ಧವಾಗಿ ತಾಯಿ, ಸೊಸೆಗೆ ವಿರುದ್ಧವಾಗಿ ಅತ್ತೆ, ಪರಸ್ಪರ ವಿರೋಧವಾಗಿ ವಿಂಗಡಿಸಿ ಹೋಗುವರು."

16.08.2025 - "ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೆ ಸೇವೆ ಸಲ್ಲಿಸುತ್ತೇವೆ"

 ಮೊದಲನೇ ವಾಚನ: ಯೆಹೋಶುವ 24:14-29

"ಈ ಕಾರಣ ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಿ. ಪೂರ್ಣ ಮನಸ್ಸಿನಿಂದ ಯಥಾರ್ಥಚಿತ್ತದಿಂದ ಅವರಿಗೆ ಸೇವೆ ಸಲ್ಲಿಸಿರಿ. ನಿಮ್ಮ ಪೂರ್ವಜರು ಯೂಪ್ರಟೀಸ್ ನದಿಯಾಚೆ ಯಲ್ಲೂ ಈಜಿಪ್ಟಿನಲ್ಲೂ ಪೂಜಿಸುತ್ತಿದ್ದ ದೇವತೆಗಳನ್ನು ತೊರೆದು ಬಿಡಿ. ಸರ್ವೇಶ್ವರನಿಗೆ ಸೇವೆ ಸಲ್ಲಿಸಿರಿ. ನಿಮಗೆ ಇದು ಸರಿ ಕಾಣದಿದ್ದರೆ ಯಾರಿಗೆ ಸೇವೆ ಸಲ್ಲಿಸಬೇಕೆಂದಿದ್ದೀರಿ ಇಂದೇ ಆರಿಸಿಕೊಳ್ಳಿ; ನಿಮ್ಮ ಪೂರ್ವಜರು ಯೂಪ್ರಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೆ ಸೇವೆ ಸಲ್ಲಿಸುತ್ತೇವೆ," ಎಂದನು. ಅದಕ್ಕೆ ಜನರು, "ಸರ್ವೇಶ್ವರನನ್ನು ಬಿಟ್ಟು ಅನ್ಯ ದೇವತೆಗಳಿಗೆ ಸೇವೆ ಸಲ್ಲಿಸುವುದು  ನಮ್ಮಿಂದ ದೂರವಿರಲಿ. ನಾವು ದಾಸತ್ವದಲ್ಲಿದ್ದ ಈಜಿಪ್ಟಿನಿಂದ ನಮ್ಮನ್ನೂ ನಮ್ಮ ಪೂರ್ವಜರನ್ನೂ ಹೊರ ತಂದವರು ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯೇ. ನಮ್ಮೆದುರಿನಲ್ಲೇ ಅವರು ಮಾಡಿದ ಅದ್ಬುತ ಕಾರ್ಯಗಳನ್ನು  ನೋಡಿದ್ದೇವೆ. ನಮ್ಮ ಎಲ್ಲಾ ಪ್ರಯಾಣಗಳಲ್ಲೂ ನಾವು ದಾಟಿಬಂದ ಜನಾಂಗಗಳಿಂದ ನಮ್ಮನ್ನು ಕಾಪಾಡಿದವರು ಅವರೇ. ಈನಾಡಿನ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಎಲ್ಲಾ ಜನಾಂಗಗಳನ್ನು ಇಲ್ಲಿಂದ ಹೊರಡಿಸಿಬಿಟ್ಟರು ಅವರೇ. ಆದುದರಿಂದ ನಾವು ಕೂಡ ಸರ್ವೇಶ್ವರನಿಗೆ ಸೇವೆ ಸಲ್ಲಿಸುತ್ತೇವೆ. ಅವರೇ ನಮ್ಮ ದೇವರು," ಎಂದು ಉತ್ತರಕೊಟ್ಟರು. ಆಗ ಯೆಹೋಶುವನು ಅವರಿಗೆ, "ನೀವು ಸರ್ವೇಶ್ವರನಿಗೆ ಸೇವೆ ಸಲ್ಲಿಸಲು ಶಕ್ತರಲ್ಲ. ಸರ್ವೇಶ್ವರ ಸ್ವಾಮಿ ಪರಿಶುದ್ದರು; ತಮಗೆ ಸಲ್ಲಿಸಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಅವರು ನಿಮ್ಮ ಪಾಪ, ಅಪರಾಧಗಳನ್ನು ಕ್ಷಮಿಸುವರು. ನೀವು ಅವರನು ಬಿಟ್ಟು ಅನ್ಯ ದೇವತೆಗಳಿಗೆ ಸೇವೆ ಸಲ್ಲಿಸಿದರೆ ನಿಮಗೆ ವಿಮುಖರಾಗಿ, ಒಳಿತಿಗೆ ಬದಲಾಗಿ ಕೇಡನ್ನೇ ಬರಮಾಡಿ ನಿಮ್ಮನ್ನು ನಾಶಮಾಡಿ ಬಿಡುವರು," ಎಂದನು. ಜನರು ಯೆಹೋಶುವನಿಗೆ, "ಇಲ್ಲ ನಾವು ಸರ್ವೇಶ್ವರ ಸ್ವಾಮಿಗೇ  ಸೇವೆ ಸಲ್ಲಿಸುತ್ತೇವೆ," ಎಂದರು. ಯೆಹೋಶುವ ಅವರಿಗೆ, "ನೀವು ಸರ್ವೇಶ್ವರನಿಗೇ ಸೇವೆ ಸಲ್ಲಿಸುವುದನ್ನು ಆರಿಸಿ ಕೊಂಡಿರುವುದಕ್ಕೆ ನೀವೇ ಸಾಕ್ಷಿಗಳು," ಎನ್ನಲು ಅವರು, "ಹೌದು, ನಾವೇ ಸಾಕ್ಷಿಗಳು," ಎಂದು ಉತ್ತರ ಕೊಟ್ಟರು. ಆಗ ಯೆಹೋಶುವ, ಹಾಗಾದರೆ ನಿಮ್ಮಲ್ಲಿರುವ ಅನ್ಯ ದೇವತೆಗಳನ್ನು ತೊರೆದು ಬಿಟ್ಟು ಇಸ್ರಯೇಲಿನ ದೇವರಾದ ಸರ್ವೇಶ್ವರನ ಕಡೆಗೆ ನಿಮ್ಮ ಹೃನ್ಮನಗಳನ್ನು ತಿರುಗಿಸಿಕೊಳ್ಳಿ," ಎಂದನು. ಅದಕ್ಕೆ ಜನರು, "ನಮ್ಮ ದೇವರಾದ ಸರ್ವೇಶ್ವರನಿಗೇ ಸೇವೆ ಸಲ್ಲಿಸುತ್ರೇವೆ.  ಅವರ ಮಾತನ್ನೇ ಕೇಳುತ್ತೇವೆ," ಎಂದರು. ಹೀಗೆ ಯೆಹೋಶುವ ಶೆಕೆಮಿನಲ್ಲಿ ಇಸ್ರಯೇಲರೊಡನೆ ಒಪ್ಪಂದ ಮಾಡಿಕೊಂಡು  ಅವರಿಗೆ ವಿಧಿ ನಿಯಮಗಳನ್ನು ನೇಮಿಸಿದನು. ಇದು ಮಾತ್ರವಲ್ಲ, ಈ ಎಲ್ಲಾ ಮಾತುಕತೆಯನ್ನು ದೇವರ ಧರ್ಮಶಾಸ್ತ್ರಗ್ರಂಥಲ್ಲಿ ಬರೆದಿಟ್ಟನು. ಒಂದು ದೊಡ್ಡ ಕಲ್ಲನ್ನು ಸರ್ವೇಶ್ವರನ ಆಲಯದ ಹತ್ತಿರದಲ್ಲೇ ಇದ್ದ ಓಕ್ ವೃಕ್ಷದ ಅಡಿಯಲ್ಲಿ ನಿಲ್ಲಿಸಿದನು. ಬಳಿಕ ಎಲ್ಲಾ ಜನರಿಗೆ,  "ಇಗೋ, ನೋಡಿ ಈ ಕಲ್ಲು! ಇದು ನಿಮ್ಮ ವಿಷಯದಲ್ಲಿ ಸಾಕ್ಷಿ ಹೇಳುವುದು. ಸರ್ವೇಶ್ವರ ನಮಗೆ ಹೇಳಿದ ಎಲ್ಲ ಮಾತುಗಳನ್ನು ಇದು ಕೇಳಿದೆ. ಆದ್ದರಿಂದ ನೀವು ನಿಮ್ಮ ದೇವರಾದ ಅವರನ್ನು ಅಲ್ಲಗಳೆದುದ್ದೇ ಆದರೆ ಈ ಕಲ್ಲೇ ನಿಮಗೆ ಸಾಕ್ಷಿಯಾಗಿರುವುದು," ಎಂದು ಹೇಳಿ ಆ ಜನರನ್ನು ಅವರವರ ಸೊತ್ತಿದ್ದಲ್ಲಿಗೆ ಕಳುಹಿಸಿಬಿಟ್ಟನು. ಇದಾದ ಮೇಲೆ ಸರ್ವೇಶ್ವರನ ದಾಸನಾದ ನೂನನ ಮಗ ಯೆಹೋಶುವನು ನೂರ ಹತ್ತು ವರ್ಷದವನಾಗಿ ಮರಣ ಹೊಂದಿದ.

ಕೀರ್ತನೆ: 16:1-2, 5, 7-8, 11
ಶ್ಲೋಕ: ನಿನ್ನ ಕೈಯಲ್ಲಿದೆ ಪ್ರಭು, ನನ್ನ ವಿಮೆ

ಶುಭಸಂದೇಶ: ಮತ್ತಾಯ 19:13-15


ಆನಂತರ ಕೆಲವರು ಚಿಕ್ಕಮಕ್ಕಳನ್ನು ಯೇಸುಸ್ವಾಮಿಯ ಬಳಿಗೆ ತಂದರು. ಶಿಷ್ಯರು ಅವರನ್ನು ಗದರಿಸಿದರು. ಆಗ ಯೇಸು, "ಚಿಕ್ಕ ಮಕ್ಕಳನ್ನು ನನ್ನ ಬಳಿಗೆ  ಬರಲು ಬಿಡಿ; ಅವುಗಳನ್ನು ತಡೆಯಬೇಡಿ. ಸ್ವರ್ಗ ಸಾಮ್ರಾಜ್ಯ ಇಂಥವರದೇ," ಎಂದರು. ತರುವಾಯ ಆ ಮಕ್ಕಳ ಮೇಲೆ ಕೈ ಇಟ್ಟು ಆಶೀರ್ವದಿಸಿದರು. ಬಳಿಕ ಅಲ್ಲಿಂದ ಹೊರಟು ಹೋದರು.

15.08.2025 - “ಎನ್ನ ಮನ ಮಾಡುತ್ತಿದೆ ಸರ್ವೇಶ್ವರನ ಸ್ತುತಿ ಉಲ್ಲಾಸಿಸುತ್ತಿದೆ ಮುಕ್ತಿದಾತ ದೇವನಲಿ"

  ಮೊದಲನೇ ವಾಚನ: ಪ್ರಕಟನಾ ಗ್ರಂಥ 11:19; 12:1-6, 10



ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ  ಮಂಜೂಷವು ಅಲ್ಲಿರುವುದು ಕಾಣಿಸಿತು. ಆಕಾಶದಲ್ಲಿ ಚಿಹ್ನೆಯೊಂದು ಕಾಣಿಸಿಕೊಂಡಿತು. ಮಹಿಳೆಯೊಬ್ಬಳು ಸೂರ್ಯಭೂಷಿತಳಾಗಿದ್ದಳು. ಆಕೆಯ ಪಾದದಡಿ ಚಂದ್ರನಿದ್ದನು. ತಲೆಯ ಮೇಲೆ ಹನ್ನೆರಡು ನಕ್ಷತ್ರ ಖಚಿತವಾದ ಕಿರೀಟವಿತ್ತು. ಆಕೆ ತುಂಬು ಗರ್ಭಿಣಿ, ಪ್ರಸವ ವೇದನೆಯಿಂದ ನರಳುತ್ತಿದ್ದಳು. ಆಕಾಶದಲ್ಲಿ ಮತ್ತೊಂದು ಚಿಹ್ನೆ ಕಾಣಿಸಿಕೊಂಡಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳಿದ್ದವು, ಹತ್ತು ಕೊಂಬುಗಳಿದ್ದವು; ಅದರ ಏಳು ತಲೆಗಳ ಮೇಲೆ ಏಳು ಮುಕುಟಗಳಿದ್ದವು. ಅದು ತನ್ನ ಬಾಲದಿಂದ ಮೂರನೆಯ ಒಂದು ಭಾಗದಷ್ಟು ನಕ್ಷತ್ರಗಳನ್ನು ಆಕಾಶದಿಂದ ಸೆಳೆದೆಳೆದು ಅವುಗಳನ್ನು ಭೂಮಿಗೆ ಎಸೆಯಿತು. ಮಗು ಹುಟ್ಟಿದ ಕೂಡಲೇ  ಅದನ್ನು ನುಂಗಿಬಿಡಬೇಕೆಂದು ಘಟಸರ್ಪವು ಆ ತುಂಬು ಗರ್ಭಿಣಿಯ ಬಳಿಯಲ್ಲಿಯೇ ಕಾಯ್ದುಕೊಂಡಿತ್ತು. ಸರ್ವಜನಾಂಗಗಳನ್ನು ಕಬ್ಬಿಣದ ದಂಡದಿಂದ ಆಳಬಲ್ಲಂಥ ಒಂದು ಗಂಡುಮಗುವಿಗೆ  ಆಕೆ ಜನ್ಮವಿತ್ತಳು. ಆದರೆ, ಆ ಮಗುವನ್ನು ಸಿOಹಾಸನದಲ್ಲಿದ್ದ ದೇವರ ಬಳಿಗೆ ಕೊಂಡೊಯ್ಯಲಾಯಿತು. ಆ ಮಹಿಳೆ ಅರಣ್ಯಕ್ಕೆ ಓಡಿ ಹೋದಳು. ಅಲ್ಲಿ ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಆಕೆಗೆ ಶುಶ್ರೂಷೆಯಾಗಬೇಕೆಂದು ದೇವರೇ ಆ ಸ್ಥಳವನ್ನು ಸಜ್ಜುಗೊಳಿಸಿದ್ದರು. ಸ್ವರ್ಗದಿಂದ ಬಂದ ಮಹಾ ಶಬ್ದವನ್ನು ನಾನು ಕೇಳಿಸಿಕೊಂಡೆ. ಅದು ಇಂತೆಂದಿತು: "ಇಗೋ, ನಮ್ಮ ದೇವನಿತ್ತ ಜೀವೋದ್ಧಾರ ಸಿದ್ಧಿಸಿದೆ ಆತನ ಶಕ್ತಿ, ಸಾಮ್ರಾಜ್ಯಗಳು ಕಂಗೊಳಿಸುತ್ತಿವೆ. ಆತನ ಕ್ರಿಸ್ತಾಧಿಪತ್ಯ ಸ್ಥಾಪಿತವಾಗಿದೆ.

ಕೀರ್ತನೆ: 45:10, 11, 12, 16

ಶ್ಲೋಕ: ಪಟ್ಟದ ರಾಣಿಯು ನಿಂತಿಹಳು ನಿನ್ನ ಬಲಪಾರ್ಶ್ವದಲ್ಲಿ, ಓಫಿರ್ ನಾಡಿನ ಚಿನ್ನಾಭರಣಗಳಿಂದ ಭೂಷಿತಳಾಗಿ

ಎರಡನೇ ವಾಚನ: 1 ಕೊರಿಂಥಿಯರಿಗೆ 15:20-27

ಕ್ರಿಸ್ತ ಯೇಸು ಪುನರುತ್ದಾನ ಹೊಂದಿದ್ದೇನೋ ಸತ್ಯಸ್ಯ ಸತ್ಯ. ಅವರ ಪುನರುತ್ದಾನವು, ಸತ್ತವರು ಪುನರುತ್ದಾನ ಹೊಂದುತ್ತಾರೆ ಎನ್ನುವುದಕ್ಕೆ ಪ್ರಮಾಣ. ಒಬ್ಬ ಮನುಷ್ಯನಿಂದ ಸಾವು ಸಂಭವಿಸಿದಂತೆಯೇ ಒಬ್ಬ ಮನುಷ್ಯನಿಂದಲೇ ಸತ್ತವರಿಗೆ ಪುನರುತ್ದಾನವು ಪರಿಣಮಿಸಿತು. ಆದಾಮನ ಸಂಬಂಧದಿಂದ ಎಲ್ಲರೂ ಸಾವಿಗೀಡಾದಂತೆ ಕ್ರಿಸ್ತಯೇಸುವಿನ ಸಂಬಂಧದಿಂದ ಎಲ್ಲರೂ ಜೀವಂತರಾಗಿ ಏಳುತ್ತಾರೆ. ಈ ಭಾಗ್ಯವನ್ನು ಒಬ್ಬೊಬ್ಬನೂ ಕ್ರಮಬದ್ಧ ರೀತಿಯಲ್ಲಿ ಪಡೆಯುತ್ತಾನೆ. ಪ್ರಪ್ರಥಮ ಫಲವಾಗಿ ಕ್ರಿಸ್ತಯೇಸುವೇ ಜೀವಂತರಾದರು. ಆನಂತರ, ಕ್ರಿಸ್ತಯೇಸುವಿಗೆ ಸೇರಿದವರು ಯೇಸು ಪುನರಾಗಮಿಸುವಾಗ ಜೀವಂತರಾಗುತ್ತಾರೆ. ಅಂತ್ಯ ಬರುವುದು ಆನಂತರವೇ. ಆಗ ಯೇಸು ಎಲ್ಲಾ ಅಧಿಪತ್ಯವನ್ನೂ ಅಧಿಕಾರವನ್ನೂ ಶಕ್ತಿಯನ್ನೂ ನಿರ್ಮೂಲಮಾಡಿ ತಂದೆಯಾದ ದೇವರಿಗೆ ಸಾಮ್ರಾಜ್ಯವನ್ನು ಒಪ್ಪಿಸಿಕೊಡುವರು.  ಶತ್ರುಗಳೆಲ್ಲರನ್ನು ತಮ ಪಾದಪೀಠವಾಗಿಸಿಕೊಳ್ಳುವ ತನಕ ಅವರು ರಾಜ್ಯವಾಳಬೇಕಾಗಿದೆ.  ಕಟ್ಟಕಡೆಗೆ ನಿರ್ಮೂಲವಾಗುವ ಶತ್ರುವೆಂದರೆ ಮೃತ್ಯುವೇ. "ದೇವರು ಎಲ್ಲವನ್ನು ಆಧೀನಪಡಿಸಿ, ಅತನ ಪಾದಪೀಠವನ್ನಾಗಿಸಿದ್ದಾರೆ," ಎಂದು ಲಿಖಿತವಾಗಿದೆ. "ಎಲ್ಲವನ್ನೂ ಅಧೀನಪಡಿಸಿಕೊಳ್ಳಲಾಗಿದೆ," ಎಂದು ಹೇಳುವಾಗ, ಹಾಗೆ ಅಧೀನಪಡಿಸಿದ ದೇವರು ಅದರಲ್ಲಿ ಸೇರಲಿಲ್ಲ ಎಂಬುದು ಸುಸ್ಪಷ್ಟವಾಗಿದೆ.

ಶುಭಸಂದೇಶ: ಲೂಕ 1:39-56

ಮರಿಯಳು ಪ್ರಯಾಣಹೊರಟು  ಜುದೇಯದ ಗುಡ್ಡಗಾಡಿನಲ್ಲಿರುವ ಒಂದು ಊರಿಗೆ ತ್ವರೆಯಾಗಿ ಬಂದಳು. ಅಲ್ಲಿ ಜಕರೀಯನ ಮನೆಗೆ ಹೋಗಿ ಎಲಿಜಬೇತಳನ್ನು ವಂದಿಸಿದಳು. ಮರಿಯಳ ವಂದನೆಯನ್ನು ಎಲಿಜಬೇತಳು ಕೇಳಿದ್ದೇ ತಡ, ಆಕೆಯ ಗರ್ಭದಲ್ಲಿದ್ದ ಶಿಶು ನಲಿದಾಡಿತು; ಎಲಿಜಬೇತಳು ಪವಿತ್ರಾತ್ಮಭರಿತಳಾಗಿ ಹರ್ಷೋದ್ಗಾರದಿಂದ  ಹೀಗೆಂದಳು: "ಸ್ತ್ರೀಯರಲ್ಲೆಲ್ಲಾ ಧನ್ಯಳು ನೀನು; ನಿನ್ನ ಕರುಳ ಕುಡಿಯೂ ಧನ್ಯ!ನನ್ನ ಪ್ರಭುವಿನ ತಾಯಿ ನೀನು; ನನ ಬಳಿಗೆ ಬಂದುದು ಅದೆಂಥ ಭಾಗ್ಯ! ನಿನ್ನ ವಂದನೆಯ ದನಿ ನನ ಕಿವಿ ತಾಕಿದೊಡನೆ ನಲಿದಾಡಿತು ಆನಂದದಿಂದ, ನನ್ನ ಕರುಳ ಕುಡಿ! ನಂಬಿ ಧನ್ಯಳಾದೆ ನೀನು, ದೇವರಿಂದ ಬಂದ ವಾರ್ತೆ ನೆರವೇರಿಯೇ ತೀರುವುದೆಂದು," ಆಗ ಮರಿಯಳು ಹೀಗೆಂದು ಹೊಗಳಿದಳು: "ಎನ್ನ ಮನ ಮಾಡುತ್ತಿದೆ ಸರ್ವೇಶ್ವರನ ಸ್ತುತಿ; ಉಲ್ಲಾಸಿಸುತ್ತಿದೆ ಮುಕ್ತಿದಾತ ದೇವನಲಿ ತನ್ನ ದಾಸಿಯ ದೀನತೆಯನ್ನು ನೆನಪಿಗೆ ತಂದುಕೊಂಡನಾತ   ಧನ್ಯಳೆಂದು ಹೊಗಳುವರೆನ್ನನು ಇಂದಿನಿಂದ ಸರ್ವಜನಾಂಗ ಏಕೆನೆ ಮಾಡಿಹನೆನಗೆ ಸರ್ವಶಕ್ತನು ಮಹತ್ಕಾರ್ಯ ನಿಜಕ್ಕೂ ಆತನ ನಾಮಧೇಯ ಪರಮಪೂಜ್ಯ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಆತನ ಪ್ರೀತಿ ತಲತಲಾಂತರದವರೆಗೆ, ಗರ್ವ ಹೃದಯಿಗಳನಾತ  ಚದರಿಸಿರುವನು ಪ್ರದರ್ಶಿಸಿರುವನು ತನ್ನ ಬಾಹುಬಲವನು ಇಳಿಸಿಹನು ಗದ್ದುಗೆಯಿಂದ ಘನಾಧಿಪತಿಗಳನು ಏರಿಸಿರುವನು ಉನ್ನತಿಗೆ ದೀನದಲಿತರನು. ತೃಪ್ತಿಪಡಿಸಿರುವನಾತ ಹಸಿದವರನು ಮೃಷ್ಟಾನ್ನದಿ, ಹೊರದೂಡಿರುವನು ಸಸಿರಿವಂತರನು ಬರೀಗೈಯಲಿ ನೆರವಾದನು ತನ್ನ ದಾಸ ಇಸ್ರಯೇಲರಿಗೆ  ಪೂರ್ವಜರಿಗಿತ್ತ ವಾಗ್ದಾನದ ಮೇರೆಗೆ ಮರೆಯಲಿಲ್ಲ ಆತ ಕರುಣೆತೋರಲು ಅಬ್ರಹಾಮನಿಗೆ ಅವನ ಸಂತತಿಗೆ, ಯುಗಯುಗಾಂತರದವರೆಗೆ," ಮರಿಯಳು ಸುಮಾರು ಮೂರು ತಿಂಗಳು ಎಲಿಜಬೇತಳೊಡನೆ ತಂಗಿದ್ದು ತನ್ನ ಮನೆಗೆ ಹಿಂದಿರುಗಿದಳು.

14.08.2025 - “ಏಳು ಸಲವಲ್ಲ, ಏಳೆಪ್ಪತ್ತುಸಲ ಕ್ಷಮಿಸಬೇಕು ಎಂದು ನಾನು ನಿನಗೆ ಒತ್ತಿ ಹೇಳುತ್ತೇನೆ”

 ಮೊದಲನೇ ವಾಚನ: ಯೆಹೋಶುವ  3:7-11, 13-17


ಆಗ ಸರ್ವೇಶ್ವರ, ಯೆಹೋಶುವನಿಗೆ: “ನಾನು ಇಂದಿನಿಂದ ನಿನ್ನನ್ನು ಇಸ್ರಯೇಲರ ಮುಂದೆ ಮಹಾತ್ಮನನ್ನಾಗಿಸುವೆನು. ನಾನು ಮೋಶೆಯ ಸಂಗಡ ಇದ್ದಹಾಗೆ ನಿನ್ನ ಸಂಗಡವೂ ಇರುವೆನೆಂದು ಅವರಿಗೆ ಗೊತ್ತಾಗುವುದು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನ್ ನದಿಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು,” ಎಂದರು. ಆಗ ಯೆಹೋಶುವನು ಇಸ್ರಯೇಲರಿಗೆ, “ಇಲ್ಲಿಗೆ ಬಂದು ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯ ಮಾತುಗಳನ್ನು ಕೇಳಿ: ಚೈತನ್ಯ ಸ್ವರೂಪರಾದ ದೇವರು ನಿಮ್ಮ ಮಧ್ಯೆ ಇದ್ದಾರೆಂದು ನಿಮಗೆ ಈಗ ತಿಳಿಯುವುದು. ಅದೇ ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು ಹಾಗೂ ಯೆಬೂಸಿಯರನ್ನು ನಿಮ್ಮ ಮುಂದಿನಿಂದ ಓಡಿಸಿಬಿಡುವರೆಂದು ನಿಮಗೆ ಗೊತ್ತಾಗುವುದು. ಹೇಗೆಂದರೆ - ಸರ್ವಲೋಕದ ಒಡೆಯನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದಾಗಿ ಹೋಗಿ ಜೋರ್ಡನಿನಲ್ಲಿ ಇಳಿಯುವುದು. ಆಗ ನೀವು ಇಸ್ರಯೇಲ್ ಕುಲಗಳಿಂದ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಳ್ಳಬೇಕು. ಸರ್ವಲೋಕದ ಒಡೆಯನಾದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಜೋರ್ಡನ್ ನದಿಯ ನೀರಿನಲ್ಲಿ ಇಡುತ್ತಲೇ ಮೇಲಿಂದ ಹರಿದು ಬರುವ ನೀರು ಮುಂದೆ ಸಾಗದೆ ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು,” ಎಂದು ತಿಳಿಸಿದನು. ಜನರು ಜೋರ್ಡನ್ ನದಿಯನ್ನು ದಾಟಲು ತಮ್ಮ ತಮ್ಮ ಡೇರೆಗಳಿಂದ ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು. ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿಗೆ ಬಂದರು. ಅದು ಸುಗ್ಗಿಯ ಕಾಲ. ನದಿ ದಡವಿೂರಿ ಹರಿಯುತ್ತಿತ್ತು. ಯಾಜಕರು ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಹರಿಯುತ್ತಿದ್ದ ಜೋರ್ಡನ್ ನದಿಯ ನೀರು ನಿಂತುಹೋಯಿತು. ಮೇಲಿಂದ ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಚಾರೆತಾನಿನ ಬಳಿಯಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು. ಜನರು ಜೆರಿಕೋವಿನ ಎದುರಿನಲ್ಲಿ ನದಿ ದಾಟಿದರು. ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿನ ನಡುವೆ ನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಯೇಲರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಹೀಗೆ ಜನರೆಲ್ಲರೂ ಜೋರ್ಡನಿನ ಆಚೆಗೆ ಸೇರಿದರು.

ಕೀರ್ತನೆ: 114:1-2, 3-4, 5-6
ಶ್ಲೋಕ: ಸಲ್ಲಿಸಿ ನೀವೆಲ್ಲ, ಪ್ರಭುವಿಗೆ ಧನ್ಯವಾದ. 

ಇಸ್ರಯೇಲ್  ಜನರು  ಈಜಿಪ್ಟನು  ಬಿಟ್ಟು  ಹೊರಟಾಗ,
ಯಕೋಬ್ಯರ  ಪರ  ನುಡಿಯಾಡುವವರನು  ಬಿಟ್ಟಗಲಿದಾಗ,,
ಜುದೇಯ  ಆಯಿತಾತನಿಗೆ  ದೇವಾಲಯ,
ಇಸ್ರಯೇಲ್  ಆಯಿತಾತನಿಗೆ  ಸ್ವರಾಜ್ಯ,,

ಇದ  ಕಂಡು  ಓಡಿಹೋಯಿತು  ಕಡಲು,
ಮರಳಿ  ಬಂದಿತು  ಜೋರ್ಡನ್  ಹೊನಲು,,
ಕುಪ್ಪಳಿಸಿದವು  ಪರ್ವತಗಳು  ಟಗರುಗಳಂತೆ,
ಕುಣಿದವು  ಬೆಟ್ಟಗುಡ್ಡಗಳು  ಕುರಿಮರಿಗಳಂತೆ,,

ಕಡಲೇ,  ಓಡುತ್ತಿರುವೆ  ಏಕೆ?,
ಜೋರ್ಡನ್,  ಮರಳುತ್ತಿರುವೆ  ಏಕೆ?,,
ಪರ್ವತಗಳೇ,  ಕುಪ್ಪಳಿಸಿದಿರೇಕೆ  ಟಗರುಗಳಂತೆ?,
ಬೆಟ್ಟಗುಡ್ಡಗಳೇ,  ಕುಣಿದಿರೇಕೆ  ಕುರಿಮರಿಗಳಂತೆ?,,

ಘೋಷಣೆ 2ತಿಮೊತಿ. 1:10

ಅಲ್ಲೆಲೂಯ, ಅಲ್ಲೆಲೂಯ!
ಮೃತ್ಯುಶಕ್ತಿಯನ್ನು ವಿನಾಶಗೊಳಿಸಿ, ಅಮರ ಜೀವವನ್ನು ಶುಭಸಂದೇಶದ ಮೂಲಕ ಬೆಳಕಿಗೆ ತಂದವರು ಯೇಸುವೇ ||
ಅಲ್ಲೆಲೂಯ!

ಶುಭಸಂದೇಶ: ಮತ್ತಾಯ 18:12-19:1


ಅನಂತರ ಪೇತ್ರನು ಯೇಸುವಿನ ಬಳಿಗೆ ಬಂದು, “ಸ್ವಾವಿೂ, ನನಗೆ ವಿರುದ್ಧ ದ್ರೋಹ ಮಾಡುತ್ತಾ ಇರುವ ನನ್ನ ಸಹೋದರನನ್ನು ಎಷ್ಟು ಸಲ ಕ್ಷಮಿಸಬೇಕು? ಏಳುಸಲವೇ?” ಎಂದು ಕೇಳಿದನು. “ಏಳು ಸಲವಲ್ಲ, ಏಳೆಪ್ಪತ್ತುಸಲ ಕ್ಷಮಿಸಬೇಕು ಎಂದು ನಾನು ನಿನಗೆ ಒತ್ತಿ ಹೇಳುತ್ತೇನೆ” ಎಂದು ಯೇಸು ಉತ್ತರವಿತ್ತರು. ಯೇಸು ತಮ್ಮ ಮಾತನ್ನು ಮುಂದುವರಿಸುತ್ತಾ, “ಸ್ವರ್ಗಸಾಮ್ರಾಜ್ಯಕ್ಕೆ ಈ ಹೋಲಿಕೆ ಅನ್ವಯಿಸುತ್ತದೆ: ಒಬ್ಬ ರಾಜನಿದ್ದ. ಅವನು ತನ್ನ ಸೇವಕರಿಂದ ಲೆಕ್ಕ ಕೇಳಲು ನಿರ್ಧರಿಸಿದ. ಲೆಕ್ಕ ತೆಗೆದುಕೊಳ್ಳಲು ಆರಂಭಿಸಿದಾಗ ಹತ್ತು ಸಾವಿರ ‘ಚಿನ್ನದ ನಾಣ್ಯ’ಗಳನ್ನು ಸಾಲವಾಗಿ ತೆರಬೇಕಾಗಿದ್ದ ಒಬ್ಬನನ್ನು ಅವನ ಸಮ್ಮುಖಕ್ಕೆ ಕರೆತರಲಾಯಿತು. ಆದರೆ ಸಾಲ ತೀರಿಸಲು ಅವನ ಕೈಯಲ್ಲಿ ಹಣವಿರಲಿಲ್ಲ. ಆದುದರಿಂದ ಅವನಿಗಿದ್ದುದೆಲ್ಲವನ್ನು ಮಾತ್ರವಲ್ಲ, ಅವನನ್ನೂ ಅವನ ಮಡದಿ ಮಕ್ಕಳನ್ನೂ ಗುಲಾಮಗಿರಿಗೆ ಮಾರಿ, ಸಾಲ ತೀರಿಸುವಂತೆ ರಾಜ ಆಜ್ಞಾಪಿಸಿದ. ಆಗ ಆ ಸೇವಕ ರಾಜನ ಕಾಲಿಗೆ ಬಿದ್ದು ಬೇಡಿಕೊಂಡ: ‘ಸ್ವಲ್ಪ ಸೈರಿಸಿಕೊಳ್ಳಿ ಸ್ವಾವಿೂ, ನಿಮ್ಮ ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಅಂಗಲಾಚಿದ. ರಾಜನಿಗೆ ಕನಿಕರ ಉಂಟಾಯಿತು. ಆ ಸೇವಕನನ್ನು ಬಿಡುಗಡೆಮಾಡಿ ಅವನ ಸಾಲವನ್ನು ಮನ್ನಿಸಿ ಬಿಟ್ಟ. “ಆದರೆ ಅದೇ ಸೇವಕ ಹೊರಗೆ ಬಂದದ್ದೇ ತನಗೆ ಕೇವಲ ನೂರು ‘ಬೆಳ್ಳಿಕಾಸು’ ಸಾಲ ತೆರಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಎದುರುಗೊಂಡ. ಅವನನ್ನು ಹಿಡಿದು, ‘ನನಗೆ ಕೊಡಬೇಕಾದ ಸಾಲವನ್ನು ಈಗಲೇ ಕೊಟ್ಟು ತೀರಿಸು,’ ಎಂದು ಕುತ್ತಿಗೆ ಹಿಸುಕಿದ. ಆಗ ಆ ಜೊತೆಗಾರ, ‘ಸ್ವಲ್ಪ ಸೈರಿಸಿಕೊ, ಕೊಟ್ಟುಬಿಡುತ್ತೇನೆ,’ ಎಂದು ಕಾಲಿಗೆ ಬಿದ್ದು ಕೇಳಿಕೊಂಡ. ಆದರೂ ಅವನು ಒಪ್ಪಲಿಲ್ಲ. ಅಷ್ಟುಮಾತ್ರವಲ್ಲ, ಸಾಲ ತೀರಿಸುವ ತನಕ ಆ ಜೊತೆಗಾರನನ್ನು ಸೆರೆಗೆ ಹಾಕಿಸಿದ. ಇದೆಲ್ಲವನ್ನು ಕಂಡ ಇತರ ಸೇವಕರು ಬಹಳವಾಗಿ ನೊಂದುಕೊಂಡರು. ರಾಜನ ಬಳಿಗೆ ಹೋಗಿ ನಡೆದುದೆಲ್ಲವನ್ನೂ ವರದಿಮಾಡಿದರು. ರಾಜನು ಅವನನ್ನು ಕರೆಯಿಸಿ, ‘ಎಲೋ ನೀಚ, ನೀನು ಬೇಡಿಕೊಂಡಿದ್ದರಿಂದ ಪೂರ್ತಿ ಸಾಲವನ್ನು ನಾನು ಮನ್ನಾಮಾಡಿದೆ. ನಾನು ನಿನಗೆ ದಯೆ ತೋರಿಸಿದಂತೆ ನೀನೂ ನಿನ್ನ ಜೊತೆಗಾರನಿಗೆ ದಯೆ ತೋರಿಸಬೇಕಿತ್ತು ಅಲ್ಲವೇ?’ ಎಂದು ಸಿಟ್ಟುಗೊಂಡ. ಬಳಿಕ ತನಗೆ ಬರಬೇಕಾಗಿದ್ದ ಸಾಲವನ್ನು ತೀರಿಸುವವರೆಗೂ ಅವನನ್ನು ಕಠಿಣ ಶಿಕ್ಷೆಗೆ ಗುರಿಪಡಿಸಿದ. “ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸೋದರನನ್ನು ಮನಃಪೂರ್ವಕವಾಗಿ ಕ್ಷಮಿಸಬೇಕು. ಇಲ್ಲದಿದ್ದರೆ ಸ್ವರ್ಗದಲ್ಲಿರುವ ನನ್ನ ತಂದೆ ನಿಮಗೆ ಇದರಂತೆಯೇ ಮಾಡುವರು,” ಎಂದರು. ಈ ವಿಷಯಗಳನ್ನು ಹೇಳಿಯಾದ ಮೇಲೆ, ಯೇಸುಸ್ವಾಮಿ ಗಲಿಲೇಯವನ್ನು ಬಿಟ್ಟು ಜೋರ್ಡನ್ ನದಿಯ ಆಚೆಕಡೆ ಇದ್ದ ಜುದೇಯ ಪ್ರಾಂತ್ಯಕ್ಕೆ ಬಂದರು.

13.08.2025 - "ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ"

 ಮೊದಲನೇ ವಾಚನ:ಧರ್ಮೋಪದೇಶಕಾಂಡ 34:1-12


ಮೋಶೆ ಮೋವಾಬ್ಯರ ಬಯಲು ನಾಡಿನಿಂದ ಜೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಪರ್ವತಕ್ಕೆ ಹೋಗಿ, ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಸರ್ವೇಶ್ವರ ಕಾನಾನ್ ನಾಡೆಲ್ಲವನ್ನು ಅಂದರೆ, ದಾನ್ ಪಟ್ಟಣದವರೆಗಿದ್ದ ಗಿಲ್ಯಾದ್ ಪ್ರಾಂತ್ಯ, ನಫ್ತಾಲಿ ಪ್ರದೇಶ, ಎಫ್ರಯಿಮ್ ಮನಸ್ಸೆ ಕುಲಗಳವರ ಪ್ರಾಂತ್ಯ, ಪಶ್ಚಿಮ ಸಮುದ್ರದವರೆಗಿದ್ದ ಜುದೇಯನಾಡು, ದಕ್ಷಿಣ ಪ್ರದೇಶ, ಜೋಗರೂರಿನ ತನಕ ಇದ್ದ ಜೆರಿಕೋ ಎಂಬ ಖರ್ಜೂರಗಳ ಪಟ್ಟಣದ ಸುತ್ತಲಿನ ಬಯಲು, ಇದನ್ನೆಲ್ಲಾ ಅವನಿಗೆ ತೋರಿಸಿದರು. ಆನಂತರ, "ನಾನು ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನ ಮಾಡಿದ ನಾಡು ಇದೇ; ಇದನ್ನು ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿ ದಾಟಿ ಅಲ್ಲಿಗೆ ಹೋಗಕೂಡದು," ಎಂದು ಹೇಳಿದರು. ಸರ್ವೇಶ್ವರನ ಮಾತಿನಂತೆ ಅವರ ದಾಸ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮೃತನಾದನು.  ಮೋವಾಬ್ಯರ ದೇಶದಲ್ಲಿ ಬೇತ್ಪೆ ಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಅವನ ದೇಹವನ್ನು ಸಮಾಧಿಮಾಡಿದರು. ಅವನ ಸಮಾಧಿ ಎಲ್ಲಿದೆಯೆಂದು ಇಂದಿನವರೆಗೆ ಯಾರಿಗೂ ತಿಳಿಯದು. ಮೋಶೆ ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ. ಮೋವಾಬ್ಯರ ಬಯಲಿನಲ್ಲಿ ಇಸ್ರಯೇಲರು ಮೋಶೆಗಾಗಿ ಮೂವತ್ತು ದಿನ ದುಃಖಿಸಿದರು. ಅಲ್ಲಿಗೆ ಮೋಶೆಯ ಸಂತಾಪದ ದಿನಗಳು ಮುಗಿದವು. ಮೋಶೆ ನೂನನ ಮಗನಾದ ಯೆಹೋಶುವನ ಮೇಲೆ ಹಸ್ತಕ್ಷೇಪಮಾಡಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಸರ್ವೇಶ್ವರ ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರ ಇಸ್ರಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು. ಸರ್ವೇಶ್ವರ ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡಿದರು. ಈಜಿಪ್ಟ್ ದೇಶದಲ್ಲಿ ಫರೋಹನ ಮುಂದೆ ಹಾಗು ಅವನ ಪ್ರಜಾಪರಿವಾರದವರ ಮುಂದೆ ಅವನು ವಿಧವಿಧವಾಗಿ ಪವಾಡಗಳನ್ನೂ ಮಹತ್ಕಾರ್ಯಗಳನ್ನೂ ನಡೆಸಿದನು; ಸರ್ವೇಶ್ವರ ಅವನನ್ನು ಅದಕ್ಕಾಗಿಯೇ ಕಳುಹಿಸಿದರು. ಇಸ್ರಯೇಲರ ಕಣ್ಮುಂದೆ ವಿಷೇಷ ಭುಜಪರಾಕ್ರಮವನ್ನೂ ಆಶ್ಚರ್ಯಕರವಾದ ಕಾರ್ಯಗಳನ್ನೂ ನಡೆಸಿದನು. ಇಂಥವನಿಗೆ ಸಮಾನನಾದ ಮತ್ತೊಬ್ಬ ಪ್ರವಾದಿ ಈಚೆಗೆ ಇಸ್ರಯೇಲರಲ್ಲಿ ಹುಟ್ಟಲೇ ಇಲ್ಲ.

ಕೀರ್ತನೆ: 66:1-3, 5, 8, 16-17
ಶ್ಲೋಕ: ನಮ್ಮ ಪ್ರಾಣವನ್ನು ಉಳಿಸಿದ ದೇವನಿಗೆ ಸ್ತೋತ್ರ

ಶುಭಸಂದೇಶ: ಮತ್ತಾಯ 18:15-20


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೇಳಿದ್ದೇನೆಂದರೆ "ನಿನ್ನ ಸೋದರನು ನಿನಗೆ ಅಪರಾಧ ಮಾಡಿದರೆ, ನೀನು ಹೋಗಿ ನೀವಿಬ್ಬರೆ ಇರುವಾಗ, ಅವನ ತಪ್ಪನ್ನು ಮನಗಾಣಿಸು. ಅವನು ನಿನಗೆ ಕಿವಿಗೊಟ್ಟರೆ ಅವನ ಸೋದರತ್ವವನ್ನು ನೀನು ಮತ್ತೆ ಗಳಿಸಿಕೊಂಡಂತಾಗುವುದು. ಒಂದು ವೇಳೆ, ಅವನು ನಿನಗೆ ಕಿವಿಗೊಡದೆ ಹೋದರೆ ಒಬ್ಬಿಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು; ಹೀಗೆ ಇಬ್ಬರು ಅಥವಾ ಮೂವರು ಸಾಕ್ಷಿಗಳ  ಸಮ್ಮುಖದಲ್ಲಿ ಪ್ರತಿಯೊಂದು ಮಾತೂ ಇತ್ಯಾರ್ಥವಾಗಲಿ. ಅವರಿಗೂ ಅವನು ಕಿವಿಗೊಡದೆ ಹೋದಲ್ಲಿ ಧರ್ಮಸಭೆಗೆ ತಿಳಿಸು. ಧರ್ಮಸಭೆಗೂ ಅವನು ಕಿವಿಗೊಡದೆ ಹೋದರೆ ಅವನನ್ನು ಧರ್ಮಭ್ರಷ್ಟನೆಂದು ಹಾಗೂ ಬಹಿಷ್ಕ್ರತನೆಂದು ಪರಿಗಣಿಸು. ನೀವು ಇಹದಲ್ಲಿ ಏನನ್ನು ಬಂಧಿಸುತ್ತೀರೋ ಅದು ಪರದಲ್ಲೂ ಬಂಧಿಸಲಾಗುವುದು; ನೀವು ಇಹದಲ್ಲಿ ಏನನ್ನು ಬಿಚ್ಚುತ್ತೀರೋ ಅದು ಪರದಲ್ಲೂ ಬಿಚ್ಚಲಾಗುವುದು. ಎಂದು ನಿಮಗೆ ಖಚಿತವಾಗಿ ಹೇಳುತ್ತೇನೆ. ಇನ್ನೂ ನಾನು ನಿಮಗೆ  ಹೇಳುವುದು ಏನೆಂದರೆ: ನಿಮ್ಮಲ್ಲಿಬ್ಬರು ತಾವು ಬೇಡಿಕೊಳ್ಳುವ ಯಾವುದಾದರೊಂದು ವಿಷಯವಾಗಿ ಇಹಲೋಕದಲ್ಲಿ ಒಮ್ಮನಸ್ಸುಳ್ಳವರಾಗಿದ್ದರೆ, ಅದು ಸ್ವರ್ಗದಲ್ಲಿರುವ ನನ್ನ ತಂದೆಯಿಂದ ಅವರಿಗೆ ಕೈಗೂಡುತ್ತದೆ. ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.

12.08.2025 - ನೀವು ಪರಿವರ್ತನೆ ಹೊಂದಿ ಮಕ್ಕಳಂತೆ ಆಗದಿದ್ದರೆ ಸ್ವರ್ಗಸಾಮ್ರಾಜ್ಯವನ್ನು ಸೇರಲಾರಿರಿ

 ಮೊದಲನೇ ವಾಚನ:ಧರ್ಮೋಪದೇಶಕಾಂಡ 31:1-8

ಮೋಶೆ ಹೋಗಿ ಇಸ್ರಯೇಲರೆಲ್ಲರಿಗೆ ಈ ಮಾತನ್ನು ತಿಳಿಸಿದನು:  "ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು;  ಸರ್ವೇಶ್ವರ ನನಗೆ, 'ನೀನು ಈ ಜೋರ್ಡನ್ ನದಿಯನ್ನು ದಾಟಕೂಡದು' ಎಂದು ಆಜ್ಞಾಪಿಸಿದ್ದಾರೆ.  ನಿಮ್ಮ ದೇವರಾದ ಸರ್ವೇಶ್ವರ ತಾವೇ ನಿಮ್ಮ ಸೇನಾನಾಯಕನಾಗಿ ನದಿಯನ್ನು ದಾಟಿಹೋಗುವರು;  ಅವರು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವರು.  ಆಗ ನೀವು ಅವರ ನಾಡನ್ನು ಸ್ವಾಧೀನಮಾಡಿಕೊಳ್ಳುವಿರಿ.  ಸರ್ವೇಶ್ವರ ಆಜ್ಞಾಪಿಸಿದಂತೆ ಯೆಹೋಶುವನು ಕೂಡ ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.  ಸರ್ವೇಶ್ವರ, ಅಮೋರಿಯರ ಅರಸರಾದ ಸೀಹೋನ್ ಹಾಗು ಓಗರನ್ನು ನಾಶಮಾಡಿ ಅವರ ದೇಶವನ್ನು ನಿಮಗೆ ಸ್ವಾಧೀನಪಡಿಸಿದಂತೆ ಆ ಜನಾಂಗಗಳನ್ನೂ ನಾಶಮಾಡಿ ಅವರ ದೇಶವನ್ನು ನಿಮಗೆ ವಶಪಡಿಸುವರು.  ಸರ್ವೇಶ್ವರ ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು.  ನೀವು ಶೂರರಾಗಿ ಧೈರ್ಯದಿಂದಿರಿ;  ಅವರಿಗೆ ಅಂಜಬೇಡಿ, ಕಳವಳಪಡಬೇಡಿ.  ನಿಮ್ಮ ದೇವರಾದ ಸರ್ವೇಶ್ವರನೇ ನಿಮ್ಮ ಸಂಗಡ ಇರುತ್ತಾರೆ;  ಅವರು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ," ಎಂದು ಹೇಳಿದನು.  ಅನಂತರ ಮೋಶೆ ಯಹೋಶುವನನ್ನು ಕರೆದು ಇಸ್ರಯೇಲರೆಲ್ಲರ ಮುಂದೆ, "ಸರ್ವೇಶ್ವರ ಇವರ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು.  ಆದುದರಿಂದ ಶೂರನಾಗಿರು, ಧೈರ್ಯದಿಂದಿರು; ಸರ್ವೇಶ್ವರ ತಾವೇ ನಿನ್ನ ಮುಂದುಗಡೆ ಹೋಗುವರು;  ಅವರೇ ನಿನ್ನ ಸಂಗಡ ಇರುವರು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ,  ಕೈಬಿಡುವುದಿಲ್ಲ, ಅಂಜಬೇಡ; ಧೈರ್ಯದಿಂದಿರು," ಎಂದು ಹೇಳಿದನು.


ಕೀರ್ತನೆ: ಧರ್ಮೋಪದೇಶಕಾಂಡ 32:3-4.7.8-9.12
ಶ್ಲೋಕ:ಪ್ರಭೂ ದಯಾಳು ಕೃಪಾಪೂರ್ಣನು

1.ಪ್ರಕಟಿಸುವೆನು ನಾನು ಸರ್ವೇಶ್ವರನ ನಾಮಮಹತ್ವವನು
  ಕೊಂಡಾಡಿ ನೀವು ಆ ದೇವನ ಮಹಾಮಹಿಮೆಯನು.
 “ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ
  ಆತನ ಮಾರ್ಗ ನ್ಯಾಯಯುತ,ಆ ದೇವ ನಂಬಿಕಸ್ತ.

2.ನೆನಪಿಗೆ ತಂದುಕೊಳ್ಳಿ ಆ ಪೂರ್ವಕಾಲವನು
  ಆಲೋಚಿಸಿ ನೋಡಿ ಪೂರ್ವಿಕರ ಚರಿತೆಯನು.
  ವಿಚಾರಿಸಿದರೆ ತಿಳಿಸುವರು ನಿಮ್ಮ ನಿಮ್ಮ ತಂದೆಗಳು
  ಕೇಳಿದರೆ ವಿವರಿಸುವರು ನಿಮ್ಮ ನಿಮ್ಮ ಹಿರಿಯರು.
 
3.ಪರಾತ್ಮರ ದೇವರು ಜನಾಂಗಗಳನು ಬೇರೆಬೇರೆ ಮಾಡಿದಾಗ,
  ಅವರವರಿಗೆ ಸ್ವದೇಶಗಳನು ವಿಂಗಡಿಸಿಕೊಟ್ಟಾಗ,
  ದೇವಕುವರರ ಸಂಖ್ಯಾನುಸಾರ ಪ್ರದೇಶಗಳನು ಗೊತ್ತುಮಾಡಿದಾಗ.

4.ಇಸ್ರಯೇಲರು ಮಾತ್ರ ಸ್ವಜನರಾದರು ಸರ್ವೇಶ್ವರನಿಗೆ,
  ಸ್ವಕೀಯ ಪ್ರಜೆಯಾದರು ಆ ಯಕೋಬ ವಂಶಜರು ಆತನಿಗೆ.
  ಅವರನು ನಡೆಸಿದವನು ಸರ್ವೇಶ್ವರನೇ, ಅನ್ಯದೇವರಾರೂ ಇಲ್ಲ, ಆತನೊರ್ವನೇ.


ಶುಭಸಂದೇಶ: ಮತ್ತಾಯ 18:1-5,10,12-14.


ಆ ಕಾಲದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು ಆ ಸಮಯದಲ್ಲಿ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, "ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತಲೂ ದೊಡ್ಡವನು ಯಾರು?" ಎಂದು ಕೇಳಿದರು. ಯೇಸು ಒಂದು ಚಿಕ್ಕ ಮಗುವನ್ನು ತಮ್ಮ ಹತ್ತಿರಕ್ಕೆ ಕರೆದು, ಅದನ್ನು ಶಿಷ್ಯರ ನಡುವೆ ನಿಲ್ಲಿಸಿ ಹೀಗೆಂದರು: “ನೀವು ಪರಿವರ್ತನೆ ಹೊಂದಿ ಮಕ್ಕಳಂತೆ ಆಗದಿದ್ದರೆ ಸ್ವರ್ಗಸಾಮ್ರಾಜ್ಯವನ್ನು ಸೇರಲಾರಿರಿ, ಎಂದು ನಿಶ್ಚಯವಾಗಿ ಹೇಳುತ್ತೇನೆ. ಈ ಮಗುವಿನಂತೆ ನಮ್ರಭಾವವುಳ್ಳವನೇ ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತ ದೊಡ್ಡವನು. ನನ್ನ ಹೆಸರಿನಲ್ಲಿ ಇಂತಹ ಮಗುವೊಂದನ್ನು ಸ್ವೀಕರಿಸುವವನು ನನ್ನನ್ನೇ ಸ್ವೀಕರಿಸುತ್ತಾನೆ." "ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ. ಸ್ವರ್ಗದಲ್ಲಿನ ಇವರ ದೂತರು ಸದಾಕಾಲ ನನ್ನ ಸ್ವರ್ಗೀಯ ಪಿತನ ಸಮ್ಮುಖದಲ್ಲಿ ಇದ್ದಾರೆ; ಇದು ನಿಮಗೆ ತಿಳಿದಿರಲಿ.“ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳು ಇವೆಯೆನ್ನೋಣ, ಅವುಗಳಲ್ಲಿ ಒಂದು ಕುರಿ ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಭತ್ತೊoಭತ್ತು ಕುರಿಗಳನ್ನು ಗುಡ್ಡದಲ್ಲೇ ಬಿಟ್ಟು, ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ? ಅದು ಸಿಕ್ಕಿತು ಅನ್ನಿ; ತಪ್ಪಿಸಿಕೊಳ್ಳದ ಈ ತೊಂಭತ್ತೊoಭತ್ತು ಕುರಿಗಳಿಗಿಂತ ಸಿಕ್ಕಿದ ಈ ಒಂದು ಕುರಿಗಾಗಿ ಅವನು ಹೆಚ್ಚು ಆನಂದಪಡುತ್ತಾನೆ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಅಂತೆಯೇ, ಈ ಚಿಕ್ಕವರಲ್ಲಿ ಒಬ್ಬನು ಕೂಡ ಕಳೆದುಹೋಗಬಾರದು; ಇದೇ ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತ. 

11.08.2025 - "ನೀನು ಸರೋವರಕ್ಕೆ ಹೋಗಿ ಗಾಳ ಹಾಕು...."

 ಮೊದಲನೇ ವಾಚನ: ಧರ್ಮೋಪದೇಶಕಾಂಡ 10:12-22



"ಆದುದರಿಂದ ಇಸ್ರಯೇಲರೇ, ನೀವು ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು; ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆಯಬೇಕು; ಅವರನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ  ಮನಸ್ಸಿನಿಂದಲೂ ಸೇವೆಮಾಡಬೇಕು; ನಾನು ನಿಮ್ಮ ಒಳಿತಿಗಾಗಿ ಈಗ ಬೋಧಿಸುವ ಅವರ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಬರಬೇಕು.  ಇಷ್ಟನ್ನೇ ಹೊರತು, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮಿಂದ ಬೇರೇನನ್ನು ಕೇಳಿಕೊಳ್ಳುವುದಿಲ್ಲ. ಇಗೋ ಕೇಳಿ; ಉನ್ನತೋನ್ನತವಾದ ಆಕಾಶಮಂಡಲವು, ಭೂಮಿಯು ಹಾಗು ಅದರಲ್ಲಿರುವ ಎಲ್ಲವು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯವೇ. ಆದರೂ ಅವರು ನಿಮ್ಮ ಪಿತೃಗಳಲ್ಲಿ ಇಷ್ಟವುಳ್ಳವರಾಗಿ ಅವರನ್ನು ಪ್ರೀತಿಸಿದರು. ಈಗ ನಿಮ್ಮ ಅನುಭವಕ್ಕೆ ಬಂದಿರುವಂತೆ, ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲ ಜನಾಂಗಗಳಿಂದ ಆರಿಸಿಕೊಂಡರು.  ಆದುದರಿಂದ ಅವರ ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರ ದೇವಾದಿದೇವರು. ಸರ್ವೇಶ್ವರಾಧಿ  ಸರ್ವೇಶ್ವರ. ಅವರು ಪರಮ ದೇವರೂ ಪರಾಕ್ರಮಿಯೂ ಭಯಂಕರವೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವವರಲ್ಲ. ಲಂಚ ತೆಗೆದುಕೊಳ್ಳುವವರಲ್ಲ. ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯದೊರಕಿಸುತ್ತಾರೆ; ಪರದೇಶಿಗಳಾದವರಿಗೆ ಪ್ರೀತಿಯಿಂದ ಅನ್ನವಸ್ತ್ರಗಳನ್ನು ನೀಡುತ್ತಾರೆ. ಈಜಿಪ್ಟ್ ದೇಶದಲ್ಲಿ ನೀವೇ ಪರದೇಶಿಗಳಾಗಿ ಇದ್ದುದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿ. ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೇ ಸೇವೆ ಸಲ್ಲಿಸಿ. ಅವರನ್ನು ಹೊಂದಿಕೊಂಡು ಅವರ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು. ಅವರೊಬ್ಬರೇ ನಿಮ್ಮ ಸ್ತುತಿಸ್ತೋತ್ರಕ್ಕೆ ಪಾತ್ರರು; ಅಲರು ನಿಮ್ಮ ದೇವರು; ನೀವು ನೋಡಿದ ಆ ಮಹಾಭಯಂಕರವಾದ ಮಹತ್ಕಾರ್ಯಗಳನ್ನು ನಿಮ್ಮ ಪರವಾಗಿ ನಡೆಸಿದವರು ಅವರೇ. ನಿಮ್ಮ ಪಿತೃಗಳು, ಎಪ್ಪತ್ತುಮಂದಿ ಮಾತ್ರ, ಈಜಿಪ್ಟ್ ದೇಶಕ್ಕೆ ಹೋದರು; ಈಗಲಾದರೋ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಂಸಖ್ಯರಾಗುವಂತೆ ಮಾಡಿದ್ದಾರೆ.

ಕೀರ್ತನೆ: 147:12-13, 14-15, 19-20

ಶ್ಲೋಕ: ಜೆರುಸಲೇಮೇ,, ಕೀರ್ತಿಸು ಪ್ರಭುವನು

ಶುಭಸಂದೇಶ: ಮತ್ತಾಯ 17:22-27


ಶಿಷ್ಯರೆಲ್ಲರು ಒಮ್ಮೆ ಗಲಿಲೇಯದಲ್ಲಿ ಒಟ್ಟಿಗೆ ಸೇರಿದ್ದರು. ಆಗ ಯೇಸು ಅವರಿಗೆ, "ನರಪುತ್ರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು; ಅವರು ಆತನನ್ನು ಕೊಲ್ಲುವರು. ಆದರೆ ಮೂರನೆಯ ದಿನ ಆತನನು ಪುನರುತ್ದಾನಗೊಳಿಸಲಾಗುವುದು," ಎಂದರು. ಅದನ್ನು ಕೇಳಿ ಶಿಷ್ಯರು ತುಂಬಾ ವ್ಯಥೆಗೊಂಡರು. ಯೇಸು ಮತ್ತು ಶಿಷ್ಯರು ಕಫೆರ್ನವುಮಿಗೆ ಹೋದರು.  ದೇವಾಲಯದ ತೆರಿಗೆಯನ್ನು ವಸೂಲಿ ಮಾಡುತ್ತಿದ್ದವರು ಪೇತ್ರನ ಬಳಿಗೆ ಬಂದು, "ನಿಮ್ಮ ಗುರು ತೆರಿಗೆ ಕಟ್ಟುವುದಿಲ್ಲವೇ?" ಎಂದು ವಿಚಾರಿಸಿದರು. ಅದಕ್ಕೆ ಪೇತ್ರನು, "ಹೌದು, ಕಟ್ಟುತ್ತಾರೆ," ಎಂದು ಉತ್ತರವಿತ್ತನು. ಬಳಿಕ ಮನೆಗೆ ಬಂದಾಗ, ಅವನು ಮಾತೆತ್ತುವುದಕ್ಕೆ ಮೊದಲೇ ಯೇಸು "ಸಿಮೋನಾ, ನಿನಗೆ ಏನನ್ನಿಸುತ್ತದೆ? ಇಹಲೋಕದ ರಾಜರು ಕಂದಾಯವನ್ನಾಗಲಿ, ತೆರಿಗೆಯನ್ನಾಗಲಿ ಯಾರಿಂದ ವಸೂಲಿಮಾಡುತ್ತಾರೆ? ತಮ್ಮ ಪುತ್ರರಿಂದಲೋ ಅಥವಾ ಪರರಿಂದಲೋ?" ಎಂದು ಕೇಳಿದರು. "ಪರರಿಂದಲೇ," ಎಂದು ಪೇತ್ರನು ಉತ್ತರಕೊಟ್ಟನು. ಯೇಸು, "ಹಾಗಾದರೆ, ಪುತ್ರರು ತೆರಿಗೆ ಕಟ್ಟಬೇಕಾಗಿಲ್ಲ ತಾನೇ? ಆದರೂ, ನಾವೂ ಇವರಿಗೆ ಅಡ್ಡಿಯಾಡಬಾರದು. ಎಂದೇ ನೀನು ಸರೋವರಕ್ಕೆ ಹೋಗಿ ಗಾಳ ಹಾಕು. ಮೊದಲು ಸಿಕ್ಕುವ ಮೀನನ್ನು ಎತ್ತಿಕೊಂಡು ಅದರ ಬಾಯಿ ತೆರೆದು ನೋಡು. ಅದರಲ್ಲಿ ಒಂದು ಬೆಳ್ಳಿ ನಾಣ್ಯ ದೊರಕುವುದು. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು," ಎಂದರು.