22.06.25 - ನಮ್ಮಲ್ಲಿರುವುದು ಐದು ರೊಟ್ಟಿ ಮತ್ತು ಎರಡು ಮೀನು ಮಾತ್ರ

ಆದಿಕಾಂಡದಿಂದ ಇಂದಿನ ಮೊದಲನೆಯ ವಾಚನ 14:18-20

ಸಾಲೇಮಿನ ಅರಸನೂ ಪರಾತ್ಪರ ದೇವರ ಯಾಜಕನೂ ಆಗಿದ್ದ ಮೆಲ್ಕಿಸದೇಕನು ಸಹ ಅಲ್ಲಿಗೆ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಅರ್ಪಿಸಿ ಅಬ್ರಾಮನಿಗೆ ಇಂತೆಂದು ಆಶೀರ್ವಾದ ಮಾಡಿದನು:

" ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಆಶೀರ್ವಾದ ಅಬ್ರಾಮನಿಗಿರಲಿ;  ನಿನ್ನ ಶತ್ರುಗಳನ್ನು ನಿನ್ನ ಕೈವಶಮಾಡಿದ ಆ ಪರಾತ್ಪರ ದೇವರಿಗೆ ಸ್ತೋತ್ರವಾಗಲಿ!" ಅಬ್ರಾಹಮನು ತಾನು ಗೆದ್ದು ತಂದಿದ್ದ ಎಲ್ಲ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಮೆಲ್ಕಿಸದೇಕನಿಗೆ ಕೊಟ್ಟನು.

ಪ್ರಭುವಿನ ವಾಕ್ಯ

ದೇವರಿಗೆ ಕೃತಜ್ಞತೆ ಸಲ್ಲಲಿ

ಕೀರ್ತನೆ 110:1-4.V.4

ಶ್ಲೋಕ:  ಮೆಲ್ಕಿಸದೇಕ್ ಪರಂಪರೆಯ ಯಾಜಕ ನೀ ನಿರುತ.

1.  ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ|
ಆಸೀನನಾಗಿರು ನೀನು ನನ್ನ ಬಲಗಡೆಗೆ|
ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ||
ಶ್ಲೋಕ
2.  ಸಿಯೋನಿನ ಹೊರಗು ವಿಸ್ತರಿಸುವನು|
ಪ್ರಭು ನಿನ್ನ ರಾಜ್ಯದಾಳಿಕೆಯನು||
ನಿನ್ನ ವೈರಿ ವಿರೋಧಿಗಳ ನಟ್ಟನಡುವೆಯೇ|
ದೊರೆತನ ಮಾಡುವೆ ನೀನು||
ಶ್ಲೋಕ
3.  ಸೇನೆಯನು ನೀ ಅಣಿಗೊಳಿಸುವ ದಿನದೊಳು|
ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು||
ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು|
ಉದಯಕಾಲದ ಇಬ್ಬನಿಯಂತೆ ಇಳಿದು ಬರುವರು||
ಶ್ಲೋಕ
4.  ಮೆಲ್ಕಿಸದೇಕ್ ಪರಂಪರೆಯ ಯಾಜಕ ನೀ ನಿರುತ|
ಬದಲಿಸನು ಪ್ರಭು ತಾನಿತ್ತ ಪ್ರಮಾಣದ ಈ ಮಾತ||
ಶ್ಲೋಕ

ಎರಡನೆಯ ವಾಚನ
ಪೌಲನು ಕೊರಿಂಥಿಯರಿಗೆ ಬರೆದ ಮೊದಲನೆಯ ಪತ್ರದಿಂದ ಇಂದಿನ ಎರಡನೆಯ ವಾಚನ 11:23-26


ಸಹೋದರರೇ, ನಿಮಗೆ ಮಾಡಿದ ಉಪದೇಶವನ್ನು ನಾನು ಪ್ರಭುವಿನಿಂಲೇ ಪಡೆದೆನು.  ಅದೇನೆಂದರೆ;  ಪ್ರಭು ಯೇಸು, ತಮ್ಮನ್ನು ಹಿಡಿದುಕೊಡಲಾದ ಆ ರಾತ್ರಿ, ರೊಟ್ಟಿಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಮುರಿದು, "ಇದು ನಿಮಗಾಗಿ ಒಪ್ಪಿಸಲಾಗುವ ನನ್ನ ಶರೀರ, ಇದನ್ನು ನನ್ನ ಸ್ಮರಣೆಗಾಗಿ ಮಾಡಿ, "ಎಂದರು.  ಅಂತೆಯೇ ಭೋಜನದ ಕೊನೆಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, "ಈ ಪಾತ್ರೆ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ; ಇದನ್ನು ನೀವು ಪಾನಮಾಡುವಾಗಲೆಲ್ಲಾ ನನ್ನ ಸ್ಮರಣೆಗಾಗಿ ಮಾಡಿರಿ, " ಎಂದರು.  ಎಂದೇ, ನೀವು ಈ ರೊಟ್ಟಿಯನ್ನು ಭುಜಿಸಿ, ಈ ಪಾತ್ರೆಯಿಂದ ಪಾನಮಾಡುವಾಗಲೆಲ್ಲಾ ಪ್ರಭು ಬರುವ ತನಕ ಅವರ ಮರಣವನ್ನು ಸಾರುತ್ತೀರಿ.
ಪ್ರಭುವಿನ ವಾಕ್ಯ
ದೇವರಿಗೆ ಕೃತಜ್ಞತೆ ಸಲ್ಲಲಿ

ಘೋಷಣೆ ಯೊವಾನ್ನ 6:51
ಅಲ್ಲೆಲೂಯ, ಅಲ್ಲೆಲೂಯ!
ನಾನೇ ಸ್ವರ್ಗದಿಂದ ಇಳಿದುಬಂದ ಜೀವಂತ ರೊಟ್ಟಿ | ಈ ರೊಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ ||
ಅಲ್ಲೆಲೂಯ!

ಶುಭಸಂದೇಶ
ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 9:11-17
ಪ್ರಭೂ, ನಿಮಗೆ ಮಹಿಮೆ ಸಲ್ಲಲಿ


ಆ ಕಾಲದಲ್ಲಿ ಯೇಸು ತಮ್ಮನ್ನು ಹಿಂಬಾಲಿಸುತ್ತಿದ್ದ ಜನಸಮೂಹವನ್ನು  ಸ್ವಾಗತಿಸಿ, ದೇವರ ಸಾಮ್ರಾಜ್ಯದ ವಿಷಯವಾಗಿ ಹೇಳಿ ಅಗತ್ಯವಿದ್ದವರಿಗೆ ಆರೋಗ್ಯದಾನ ಮಾಡಿದರು.  ಅಷ್ಟರಲ್ಲಿ ಸಾಯಂಕಾಲವಾಗುತ್ತಾ ಬಂದಿತು.  ಹನ್ನೆರಡು ಮಂದಿ ಪ್ರೇಷಿತರು ಯೇಸುವಿನ ಬಳಿಗೆ ಬಂದು, " ಇದು ನಿರ್ಜನ ಪ್ರದೇಶ; ಜನರನ್ನು ಕಳುಹಿಸಿಬಿಡಿ.  ಅವರು ಸಮೀಪದ ಊರುಕೇರಿಗಳಿಗೂ ಹೋಗಿ ಊಟವಸತಿಯನ್ನು ಒದಗಿಸಿಕೊಳ್ಳಲಿ, "ಎಂದರು.  ಅದಕ್ಕೆ ಯೇಸು, "ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿ," ಎಂದರು.  ಅವರು, "ನಮ್ಮಲ್ಲಿರುವುದು ಐದು ರೊಟ್ಟಿ ಮತ್ತು ಎರಡು ಮೀನು ಮಾತ್ರ.  ನಾವು ಹೋಗಿ ಇವರೆಲ್ಲರಿಗೆ ಬೇಕಾಗುವಷ್ಟು ಊಟ ಕೊಂಡುಕೊಂಡು ಬರಬೇಕೇ? "ಎಂದರು.  ಏಕೆಂದರೆ ಅಲ್ಲಿ ಗಂಡಸರೇ ಸುಮಾರು ಐದು ಸಾವಿರ ಮಂದಿ ಇದ್ದರು.  ಆಗ ಯೇಸು ಶಿಷ್ಯರಿಗೆ, "ಇವರನ್ನು ಐವತ್ತು ಐವತ್ತರಂತೆ ಪಂಕ್ತಿಯಾಗಿ ಕೂರಿಸಿರಿ, "ಎಂದು ಹೇಳಲು ಅವರು ಹಾಗೆಯೇ ಎಲ್ಲರನ್ನು ಕುಳ್ಳರಿಸಿದರು.  ಅನಂತರ ಯೇಸು ಆ ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ ತೆಗೆದುಕೊಂಡು ಸ್ವರ್ಗದತ್ತ ಕಣ್ಣೆತ್ತಿ ನೋಡಿ, ದೇವರಿಗೆ ಸ್ತೋತ್ರ ಸಲ್ಲಿಸಿದರು.  ತರುವಾಯ ಅವುಗಳನ್ನು ಮುರಿದು ಜನಸಮೂಹಕ್ಕೆ ಬಡಿಸುವಂತೆ ಶಿಷ್ಯರಿಗೆ ಕೊಟ್ಟರು.  ಎಲ್ಲರೂ ಹೊಟ್ಟೆ ತುಂಬ ತಿಂದು ಸಂತೃಪ್ತರಾದರು.  ಇನ್ನು ಉಳಿದಿದ್ದ ತುಂಡುಗಳನ್ನು ಒಟ್ಟುಗೂಡಿಸಿದಾಗ ಅವು ಹನ್ನೆರಡು ಬುಟ್ಟಿ ತುಂಬ ಆದವು.

ಪ್ರಭುವಿನ ಶುಭಸಂದೇಶ
ಕ್ರಿಸ್ತರೇ, ನಿಮಗೆ ಸ್ತುತಿ ಸಲ್ಲಲಿ

30.05.25 "ನಾನು ನಿಮ್ಮನ್ನು ಮರಳಿ ಕಂಡಾಗ, ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳುವುದಿಲ್ಲ"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 18:9-18


ಒಂದು ರಾತ್ರಿ ಪೌಲನಿಗೆ ಪ್ರಭು ದರ್ಶನ ಇತ್ತು, “ಭಯಪಡಬೇಡ, ಬೋಧನೆ ಮಾಡುವುದನ್ನು ಮುಂದುವರಿಸು, ನಾನು ನಿನ್ನೊಡನೆ ಇದ್ದೇನೆ. ಯಾರೂ ನಿನ್ನ ಮೇಲೆ ಬಿದ್ದು ಹಾನಿಮಾಡುವುದಿಲ್ಲ. ಪಟ್ಟಣದ ಅನೇಕ ಜನರು ನನ್ನ ಪರವಾಗಿದ್ದಾರೆ,” ಎಂದರು. ಅಂತೆಯೇ ಪೌಲನು ಒಂದೂವರೆ ವರ್ಷಕಾಲ ಅಲ್ಲಿದ್ದು ದೇವರವಾಕ್ಯವನ್ನು ಜನರಿಗೆ ಬೋಧಿಸಿದನು. ಗಲ್ಲಿಯೋ ಎಂಬವನು ಅಖಾಯದಲ್ಲಿ ರಾಜ್ಯಪಾಲನಾಗಿದ್ದಾಗ, ಯೆಹೂದ್ಯರು ಪೌಲನ ವಿರುದ್ಧ ಒಟ್ಟುಗೂಡಿ ಅವನನ್ನು ಬಂಧಿಸಿ ನ್ಯಾಯಸ್ಥಾನಕ್ಕೆ ಕೊಂಡೊಯ್ದರು. “ಧರ್ಮಶಾಸ್ತ್ರಕ್ಕೆ ವ್ಯತಿರಿಕ್ತವಾದ ರೀತಿಯಲ್ಲಿ ದೇವರನ್ನು ಆರಾಧಿಸುವಂತೆ ಈ ಮನುಷ್ಯ ಜನರನ್ನು ಪ್ರೇರೇಪಿಸುತ್ತಾ ಇದ್ದಾನೆ,” ಎಂದು ಅಲ್ಲಿ ದೂರಿತ್ತರು. ಪೌಲನು ಮಾತನಾಡಬೇಕೆಂದಿರುವಾಗ, ಗಲ್ಲಿಯೋ ಯೆಹೂದ್ಯರನ್ನು ಸಂಬೋಧಿಸಿ, “ಯೆಹೂದ್ಯರೇ, ಅನ್ಯಾಯವಾಗಲಿ, ಅಕ್ರಮವಾಗಲಿ ನಡೆದಿದ್ದ ಪಕ್ಷದಲ್ಲಿ, ನಿಮ್ಮ ಅಪಾದನೆಗಳನ್ನು ತಾಳ್ಮೆಯಿಂದ ಕೇಳಬೇಕಾದುದು ಸರಿಯಷ್ಟೆ. ಆದರೆ ಇದು ನಾಮನೇಮಗಳಿಗೆ ಹಾಗು ನಿಮ್ಮ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ಪ್ರಶ್ನೆ. ಅದನ್ನು ನಿಮ್ಮನಿಮ್ಮಲ್ಲೇ ಇತ್ಯರ್ಥಮಾಡಿಕೊಳ್ಳಿ. ಇಂಥ ವಿಷಯಗಳನ್ನು ವಿಚಾರಣೆಮಾಡಲು ನನಗೆ ಮನಸ್ಸಿಲ್ಲ,” ಎಂದು ಹೇಳಿ ಅವರನ್ನು ನ್ಯಾಯಸ್ಥಾನದಿಂದ ಹೊರಗಟ್ಟಿದನು. ಆಗ ಅವರೆಲ್ಲರೂ ಪ್ರಾರ್ಥನಾಮಂದಿರದ ಅಧ್ಯಕ್ಷ ಸೋಸ್ಥೆನನನ್ನು ಬಂಧಿಸಿ, ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋ ಇದೊಂದನ್ನೂ ಲಕ್ಷಿಸಲಿಲ್ಲ. ಇದಾದ ಮೇಲೆ ಪೌಲನು ಕೊರಿಂಥದಲ್ಲಿ ಅನೇಕ ದಿನ ಇದ್ದನು. ಅನಂತರ ಭಕ್ತವಿಶ್ವಾಸಿಗಳನ್ನು ಬೀಳ್ಕೊಟ್ಟು ಅಕ್ವಿಲ ಮತ್ತು ಪ್ರಿಸ್ಸಿಲರೊಡನೆ ಸಿರಿಯಕ್ಕೆ ನೌಕಾಯಾನ ಹೊರಟನು. ತಾನು ಮಾಡಿದ್ದ ಹರಕೆಯ ಪ್ರಕಾರ ಕೆಂಖ್ರೆಯೆಂಬ ಸ್ಥಳದಲ್ಲಿ ಮುಂಡನ ಮಾಡಿಸಿಕೊಂಡನು. 

ಕೀರ್ತನೆ: 47:2-3, 4-5, 6-7
ಶ್ಲೋಕ: ದೇವನು ಭೂಮಂಡಲಕ್ಕೆಲ್ಲಾ ಒಡೆಯನು

ಪರಾತ್ಪರನಾದ ಪ್ರಭುವು ಘನಗಂಭೀರನು I
ಪ್ರಪಂಚಕ್ಕೆಲ್ಲ ರಾಜಾಧಿರಾಜನು II
ಜನಾಂಗಗಳನಾತ ನಮಗಧೀನಪಡಿಸಿಹನು I
ರಾಷ್ಟ್ರಗಳನು ನಮಗೆ ಪಾದಪೀಠವಾಗಿಸಿಹನು II

ಆಯ್ದನಾಡನು ಸೊತ್ತಾಗಿ ನೀಡಿದನೆಮಗೆ I
ಪ್ರತಿಷ್ಠಿತರು ನಾವುಆತನೊಲಿದ ಯಕೋಬಿಗೆ II
ಏರಿದನು ಪ್ರಭು ಜಯಜಯಕಾರದೊಂದಿಗೆ I
ಆರೋಹಣವಾದನು ತುತೂರಿನಾದ ಜೊತೆಗೆ II

ಕೀರ್ತಿಸಿರಿನಮ್ಮ ದೇವನನು ಸಂಕೀರ್ತಿಸಿರಿ I
ಕೀರ್ತಿಸಿರಿನಮ್ಮ ರಾಜನನು ಸಂಕೀರ್ತಿಸಿರಿ II
ದೇವನು ಭೂಮಂಡಲಕ್ಕೆಲ್ಲಾ ಒಡೆಯನು I

ಕೀರ್ತನೆಯಿಂದ ಕೊಂಡಾಡಿರಿ ಆತನನು II


ಶುಭಸಂದೇಶ: ಯೊವಾನ್ನ 16:20-23


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ನೀವು ಅತ್ತುಗೋಳಾಡುವಿರಿ; ಲೋಕವಾದರೋ ನಕ್ಕು ನಲಿದಾಡುವುದು. ನೀವು ದುಃಖಪಡುವಿರಿ. ಆದರೆ ನಿಮ್ಮ ದುಃಖ ಆನಂದವಾಗಿ ಮಾರ್ಪಡುವುದು. ಗರ್ಭಿಣಿಯಾದ ಸ್ತ್ರೀಯು ಪ್ರಸವಿಸುವ ಗಳಿಗೆ ಬಂದಾಗ ವೇದನೆಪಡುತ್ತಾಳೆ; ಮಗುವನ್ನು ಹೆರುತ್ತಲೇ ಜಗದಲ್ಲಿ ಮಾನವನೊಬ್ಬನು ಜನಿಸಿದನೆಂಬ ಉಲ್ಲಾಸದಿಂದ ತಾನು ಪಟ್ಟ ವೇದನೆಯನ್ನು ಮರೆತುಬಿಡುತ್ತಾಳೆ; ನಿಮಗೆ ಈಗ ದುಃಖವಿದೆ; ನಾನು ನಿಮ್ಮನ್ನು ಮರಳಿ ಕಂಡಾಗ, ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳುವುದಿಲ್ಲ. ಆ ದಿನದಂದು ನನ್ನಿಂದ ನೀವೇನನ್ನೂ ಕೇಳುವಂತಿಲ್ಲ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಪಿತನಲ್ಲಿ ಏನನ್ನು ಬೇಡಿಕೊಂಡರೂ ನಿಮಗೆ ಅವರು ನನ್ನ ಹೆಸರಿನಲ್ಲಿ ಕೊಟ್ಟೇತೀರುವರು."

29.05.25 - "ನೀವು ದುಃಖಪಡುವಿರಿ. ಆದರೆ ನಿಮ್ಮ ದುಃಖ ಆನಂದವಾಗಿ ಮಾರ್ಪಡುವುದು."

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 18:1-8

ಪೌಲನು ಅಥೆನ್ಸ್ ಅನ್ನು ಬಿಟ್ಟು ಕೊರಿಂಥಕ್ಕೆ ಹೋದನು. ಪೊಂತ ಎಂಬ ಊರಿನ ಅಕ್ವಿಲ ಎಂಬ ಯೆಹೂದ್ಯನನ್ನು ಅಲ್ಲಿ ಕಂಡನು. ಚಕ್ರವರ್ತಿ ಕ್ಲಾಡಿಯಸನು ಯೆಹೂದ್ಯರೆಲ್ಲರೂ ರೋಮ್‍ನಗರವನ್ನು ಬಿಟ್ಟುಹೋಗಬೇಕೆಂದು ಆಜ್ಞಾಪಿಸಿದ್ದರಿಂದ, ಈ ಅಕ್ವಿಲನು ತನ್ನ ಪತ್ನಿ ಪ್ರಿಸ್ಸಿಲಳೊಂದಿಗೆ ಇಟಲಿಯಿಂದ ಇತ್ತೀಚೆಗೆ ಬಂದಿದ್ದನು. ಪೌಲನು ಅವರನ್ನು ನೋಡಲು ಹೋದನು. ಅವರು ತನ್ನಂತೆಯೇ ಗುಡಾರ ಮಾಡುವ ಕಸುಬಿನವರಾಗಿದ್ದರಿಂದ ಅವರಲ್ಲೇ ತಂಗಿದ್ದು ಅವರೊಡನೆ ಕೆಲಸ ಮಾಡುತ್ತಾ ಬಂದನು. ಪ್ರತಿ ಸಬ್ಬತ್‍ ದಿನ ಅವನು ಪ್ರಾರ್ಥನಾಮಂದಿರದಲ್ಲಿ ಚರ್ಚಿಸುತ್ತಾ ಯೆಹೂದ್ಯರನ್ನು ಮತ್ತು ಗ್ರೀಕರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸುತ್ತಿದ್ದನು. ಸೀಲ ಮತ್ತು ತಿಮೊಥೇಯ ಮಕೆದೋನಿಯದಿಂದ ಬಂದ ಮೇಲೆ ಪೌಲನು ಶುಭಸಂದೇಶವನ್ನು ಸಾರುವುದರಲ್ಲೂ ಯೇಸುವೇ ಬರಬೇಕಾದ ಲೋಕೋದ್ಧಾರಕ ಎಂದು ಯೆಹೂದ್ಯರಿಗೆ ರುಜುವಾತುಪಡಿಸುವುದರಲ್ಲೂ ತನ್ನ ಸಮಯವನ್ನು ಕಳೆದನು. ಆದರೆ ಆ ಯೆಹೂದ್ಯರು ಅವನನ್ನು ಪ್ರತಿಭಟಿಸಿ ದೂಷಿಸಿದರು. ಆಗ ಪೌಲನು ತನ್ನ ಹೊದಿಕೆಯನ್ನು ಒದರಿ, “ನಿಮ್ಮ ವಿನಾಶಕ್ಕೆ ನೀವೇ ಹೊಣೆ; ಅದಕ್ಕೆ ನಾನು ಬಾಧ್ಯನಲ್ಲ. ಇಂದಿನಿಂದ ನಾನು ಅನ್ಯಧರ್ಮೀಯರ ಕಡೆಗೆ ಹೋಗುತ್ತೇನೆ,” ಎಂದನು. ಅಂತೆಯೇ ಅವರನ್ನು ಬಿಟ್ಟು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದ ತೀತಯುಸ್ತ ಎಂಬವನ ಮನೆಗೆ ಹೋದನು. ಅವನ ಮನೆ ಪ್ರಾರ್ಥನಾ ಮಂದಿರದ ಪಕ್ಕದಲ್ಲೇ ಇತ್ತು. ಪ್ರಾರ್ಥನಾಮಂದಿರದ ಅಧ್ಯಕ್ಷ ಕ್ರಿಸ್ಪ ಎಂಬವನೂ ಅವನ ಮನೆಯವರೆಲ್ಲರೂ ಪ್ರಭುವಿನಲ್ಲಿ ವಿಶ್ವಾಸವಿಟ್ಟರು. ಕೊರಿಂಥದ ಇನ್ನೂ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟರು ಮತ್ತು ದೀಕ್ಷಾಸ್ನಾನ ಪಡೆದರು.

ಕೀರ್ತನೆ: 98:1, 2-3, 3-4
ಶ್ಲೋಕ: ರಾಷ್ಟ್ರಗಳಿಗೆ ತೋರಿಸಿಹನು ಪ್ರಭು ಜೀವೋದ್ಧಾರಕ ಶಕ್ತಿಯನು

ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು 
ಎಸಗಿಹನಾತನು ಪವಾಡಕಾರ್ಯಗಳನು I
ಗಳಿಸಿತಾತನ ಕೈ ಪೂತಭುಜ ಗೆಲುವನು II

ಪ್ರಕಟಿಸಿಹನಾ ಪ್ರಭು ತನ್ನ ಮುಕ್ತಿವಿಧಾನವನು I
ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ಧಾರಕಾ ಶಕ್ತಿಯನು II
ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I
ನಮ್ಮ ದೇವ ಸಾಧಿಸಿದ ಜಯಗಳಿಕೆ II
ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I
ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II

ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I
ನಮ್ಮ ದೇವ ಸಾಧಿಸಿದ ಜಯಗಳಿಕೆ II
ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I
ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II

ಭೂನಿವಾಸಿಗಳೇಮಾಡಿರಿ ಜಯಕಾರ ಪ್ರಭುವಿಗೆ I

ಶುಭಸಂದೇಶ:  ಯೊವಾನ್ನ16:16-20

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ತುಸುಕಾಲವಾದ ನಂತರ ನೀವು ನನ್ನನ್ನು ಕಾಣಲಾರಿರಿ. ಅನಂತರ ತುಸುಕಾಲ ಕಳೆಯುತ್ತಲೇ ನನ್ನನ್ನು ಪುನಃ ಕಾಣುವಿರಿ,” ಎಂದರು ಯೇಸುಸ್ವಾಮಿ. ಇದನ್ನು ಕೇಳಿದ ಕೆಲವು ಮಂದಿ ಶಿಷ್ಯರು, “ಇದೇನು ಇವರು ಹೇಳುತ್ತಿರುವುದು? ‘ತುಸುಕಾಲವಾದ ನಂತರ ನೀವು ನನ್ನನ್ನು ಕಾಣಲಾರಿರಿ. ಅನಂತರ ತುಸುಕಾಲ ಕಳೆಯುತ್ತಲೇ ನೀವು ನನ್ನನ್ನು ಪುನಃ ಕಾಣುವಿರಿ ಮತ್ತು ಪಿತನಲ್ಲಿಗೆ ನಾನು ಹೋಗುತ್ತೇನೆ,’ ಎನ್ನುತ್ತಾರಲ್ಲ?  ತುಸುಕಾಲ’ ಎಂದರೇನು? ಇವರ ಮಾತೇ ನಮಗೆ ಅರ್ಥವಾಗುತ್ತಿಲ್ಲವಲ್ಲಾ,” ಎಂದು ತಮ್ಮ ತಮ್ಮೊಳಗೆ ಮಾತನಾಡತೊಡಗಿದರು. ಯೇಸು, ತಮ್ಮಲ್ಲಿ ಅವರು ವಿಚಾರಿಸಬೇಕೆಂದಿದ್ದಾರೆಂದು ತಿಳಿದುಕೊಂಡು, ‘ತುಸುಕಾಲದ ನಂತರ ನೀವು ನನ್ನನ್ನು ಕಾಣಲಾರಿರಿ. ಅನಂತರ ತುಸುಕಾಲ ಕಳೆಯುತ್ತಲೇ ನನ್ನನ್ನು ಪುನಃ ಕಾಣುವಿರಿ’ ಎಂದು ನಾನು ಹೇಳಿದ್ದನ್ನು ಕುರಿತು ನಿಮ್ಮ ನಿಮ್ಮಲ್ಲಿಯೇ ನೀವು ಚರ್ಚಿಸುತ್ತಿರುವುದೇನು? ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಅತ್ತು ಗೋಳಾಡುವಿರಿ; ಲೋಕವಾದರೋ ನಕ್ಕು ನಲಿದಾಡುವುದು. ನೀವು ದುಃಖಪಡುವಿರಿ. ಆದರೆ ನಿಮ್ಮ ದುಃಖ ಆನಂದವಾಗಿ ಮಾರ್ಪಡುವುದು."

28.05.25 - "ಪವಿತ್ರಾತ್ಮ ಬಂದಮೇಲೆ ನಿಮ್ಮನ್ನು ಸಮಗ್ರ ಸತ್ಯದೆಡೆಗೆ ಕರೆದೊಯ್ಯುವರು"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 17:15, 22-18:1

ಪೌಲನನ್ನು ಬಿಟ್ಟುಬರಲು ಹೋದವರು ಅವನ ಜೊತೆ ಅಥೆನ್ಸಿನವರೆಗೆ ಹೋದರು; ಅನಂತರ ಸೀಲ ಮತ್ತು ತಿಮೊಥೇಯರಿಬ್ಬರೂ ಸಾಧ್ಯವಾದಷ್ಟು ಬೇಗ ತನ್ನ ಬಳಿಗೆ ಬಂದು ಸೇರಬೇಕೆಂಬ ಆಜ್ಞೆಯನ್ನು ಪೌಲನಿಂದ ಪಡೆದು, ಅವರು ಬೆರೋಯಕ್ಕೆ ಹಿಂದಿರುಗಿದರು. ಪೌಲನು ಅರಿಯೊಪಾಗಿನ ಸಭೆಯ ಮುಂದೆ ನಿಂತು ಹೀಗೆಂದನು: “ಅಥೆನ್ಸಿನ ಮಹಾಜನರೇ, ನೀವು ಎಲ್ಲಾ ವಿಧದಲ್ಲೂ ಬಹು ಧರ್ಮನಿಷ್ಠರೆಂದು ನನಗೆ ತೋರುತ್ತದೆ. ನಿಮ್ಮ ಪಟ್ಟಣದಲ್ಲಿ ನಾನು ತಿರುಗಾಡುತ್ತಾ, ನೀವು ಪೂಜಿಸುವ ವಿಗ್ರಹಗಳನ್ನು ಗಮನಿಸುತ್ತಾ ಇದ್ದಾಗ ಒಂದು ಬಲಿಪೀಠವು ಕಣ್ಣಿಗೆ ಬಿದ್ದಿತು. ಅದರ ಮೇಲೆ ‘ಅಜ್ಞಾತ ದೇವರಿಗೆ’ ಎಂಬ ಲಿಖಿತವಿತ್ತು. ನೀವು ಅರಿಯದೆ ಆರಾಧಿಸುವ ಆ ದೇವರನ್ನೇ ಅರುಹಿಸಲು ನಾನು ಬಂದಿರುತ್ತೇನೆ. ಜಗತ್ತನ್ನು ಹಾಗೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ದೇವರು ಇಹಪರಗಳಿಗೆ ಒಡೆಯರು; ಮಾನವನು ನಿರ್ಮಿಸಿದ ಗುಡಿಗಳಲ್ಲಿ ಅವರು ಮನೆಮಾಡುವಂಥವರಲ್ಲ. ಎಲ್ಲಾ ಜೀವಿಗಳಿಗೆ ಪ್ರಾಣವನ್ನೂ ಶ್ವಾಸವನ್ನೂ ಸಮಸ್ತವನ್ನೂ ಕೊಡುವವರು ಅವರೇ; ಎಂದೇ ಅವರಿಗಾಗಿ ಮಾನವನು ದುಡಿಯಬೇಕಾದ ಅವಶ್ಯಕತೆ ಇಲ್ಲ. ಅಂಥ ಕೊರತೆ ಅವರಿಗೇನೂ ಇಲ್ಲ. ಒಂದೇ ಮೂಲದಿಂದ ಅವರು ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ ಭೂಮಂಡಲದಲ್ಲೆಲ್ಲಾ ಜೀವಿಸುವಂತೆ ಮಾಡಿದ್ದಾರೆ. ಆಯಾ ಜನಾಂಗದ ಕಾಲಾವಧಿಯನ್ನೂ ಅವರವರ ನೆಲೆಯ ಎಲ್ಲೆಮೇರೆಗಳನ್ನೂ ಮುಂಚಿತವಾಗಿ ಅವರೇ ನಿರ್ಧರಿಸಿದ್ದಾರೆ. ಜನರು ತಮ್ಮನ್ನು ಅರಸಬೇಕೆಂಬುದೇ ಅವರ ಉದ್ದೇಶ; ಹೀಗಾದರೂ ತಮ್ಮನ್ನು ಅರಸಿ ಸಾಕ್ಷಾತ್ಕರಿಸಿಕೊಂಡಾರು ಎಂದು ದೇವರು ಹೀಗೆ ಮಾಡಿದರು. ಆದರೂ, ನಮ್ಮಲ್ಲಿ ಯಾರೊಬ್ಬರಿಂದಲೂ ದೇವರು ದೂರವಿಲ್ಲ. ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ಅವರಲ್ಲೇ’; ನಿಮ್ಮ ಕವಿಗಳಲ್ಲೇ ಕೆಲವರು ಹೇಳಿರುವಂತೆ, ‘ನಾವು ನಿಜವಾಗಿ ದೇವರ ಮಕ್ಕಳು.’ “ನಾವು ದೇವರ ಮಕ್ಕಳಾಗಿರುವುದರಿಂದ ಜನರು ಕಲಾಕುಶಲತೆಯಿಂದಲೂ ಕಲ್ಪನೆಯಿಂದಲೂ ರೂಪಿಸಿದ ಚಿನ್ನ, ಬೆಳ್ಳಿ, ಶಿಲೆಗಳ ಪ್ರತಿಮೆಗೆ ದೇವರು ಸಮಾನರೆಂದು ಭಾವಿಸಲಾಗದು. ಮಾನವರು ತಮ್ಮನ್ನು ಅರಿಯದೆ ಬಾಳಿದ ಕಾಲವನ್ನು ದೇವರು ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲೆಡೆಯಲ್ಲಿರುವ ಸರ್ವಮಾನವರು ದುರ್ಮಾರ್ಗಗಳನ್ನು ಬಿಟ್ಟು ತಮಗೆ ಅಭಿಮುಖರಾಗಬೇಕೆಂದು ಆಜ್ಞಾಪಿಸುತ್ತಾರೆ. ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.” ಸತ್ತವರ ಪುನರುತ್ಥಾನದ ಬಗ್ಗೆ ಪೌಲನು ಮಾತಾಡಿದಾಗ ಕೆಲವರು ಪರಿಹಾಸ್ಯಮಾಡಿದರು. ಉಳಿದವರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ,” ಎಂದರು. ಹೀಗೆ ಪೌಲನು ಆ ಸಭೆಯಿಂದ ನಿರ್ಗಮಿಸಿದನು. ಕೆಲವರು ಅವನನ್ನು ಸೇರಿಕೊಂಡು ಭಕ್ತವಿಶ್ವಾಸಿಗಳಾದರು. ಇವರಲ್ಲಿ ಅರಿಯೊಪಾಗದ ದಿಯೊನಿಸಿಯನೂ ದಮಾರಿ ಎಂಬ ಸ್ತ್ರೀಯೂ ಮತ್ತಿತರರೂ ಇದ್ದರು.  ಇದಾದಮೇಲೆ ಪೌಲನು ಅಥೆನ್ಸ್ ಅನ್ನು ಬಿಟ್ಟು ಕೊರಿಂಥಕ್ಕೆ ಹೋದನು.

ಕೀರ್ತನೆ: 148:1-2, 11-12, 13, 14
ಶ್ಲೋಕ: ಭೂಮ್ಯಾಕಾಶ ಮೀರಿದೆ ಆತನ ಮಹಿಮೆ

ಹೊಗಳಿರಿ ಸ್ವರ್ಗದಿಂದ ಪ್ರಭುವನು I
ವಂದಿಸಿ ಮಹೋನ್ನತದಲಿ ಆತನನು II
ಆತನ ಸಮಸ್ತ ದೂತರೇಸ್ತುತಿಸಿ ಆತನನು I
ಆತನ ಎಲ್ಲಾ ಗಣಗಳೇಹೊಗಳಿ ಆತನನು II

ಭೂರಾಜರುಎಲ್ಲ ಜನಾಂಗಗಳು I
ಅಧಿಕಾರಿಗಳುದೇಶಾಧಿಪತಿಗಳು II
ಯುವಕರೂ ಯುವತಿಯರೂ I
ಮುದುಕರೂ ಮಕ್ಕಳೂ II

ಹೊಗಳಲಿ ಇವರೆಲ್ಲರು ಪ್ರಭುವಿನ ನಾಮವನು I
ಭೂಮ್ಯಾಕಾಶ ಮೀರಿದ ಆತನ ಮಹಿಮೆಯನು I
ಆತನ ಮಹತ್ತಾದ ಏಕೈಕ ನಾಮವನು II

ಕೋಡು ಮೂಡಿಸಿಹನು ಪ್ರಭು ತನ್ನ ಪ್ರಜೆಗೆ I
ಖ್ಯಾತಿ ತಂದಿಹನು ತನ್ನ ಭಕ್ತಾದಿಗಳಿಗೆ I
ತನ್ನ ಆಪ್ತಜನರಾದ ಇಸ್ರಯೇಲರಿಗೆ I

ಅಲ್ಲೆಲೂಯII

ಶುಭಸಂದೇಶ: ಯೊವಾನ್ನ 16:12-15


ಯೆಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು:  "ನಾನು ನಿಮಗೆ ಹೇಳಬೇಕಾದುದು ಇನ್ನೂ ಎಷ್ಟೋ ಇದೆ. ಸದ್ಯಕ್ಕೆ ಅವು ನಿಮಗೆ ಹೊರಲಾಗದ ಹೊರೆಯಾಗಬಾರದು. ಹೇಗೂ ಸತ್ಯಸ್ವರೂಪಿ ಆದ ಪವಿತ್ರಾತ್ಮ ಬಂದಮೇಲೆ ನಿಮ್ಮನ್ನು ಸಮಗ್ರ ಸತ್ಯದೆಡೆಗೆ ಕರೆದೊಯ್ಯುವರು. ಅವರು ತಮ್ಮಷ್ಟಕ್ಕೆ ತಾವೇ ಏನನ್ನೂ ಬೋಧಿಸದೆ ತಾವು ಕೇಳಿದುದನ್ನು ಕುರಿತೇ ಮಾತನಾಡುವರು; ಮುಂದೆ ನಡೆಯಲಿರುವುದನ್ನೂ ನಿಮಗೆ ತಿಳಿಸುವರು. ಅವರು, ನಾನು ಹೇಳಿದವುಗಳಿಂದಲೇ ಆಯ್ದು ನಿಮಗೆ ತಿಳಿಯಪಡಿಸಿ ನನ್ನ ಮಹಿಮೆಯನ್ನು ಬೆಳಗಿಸುವರು. ಪಿತನಿಗೆ ಇರುವುದೆಲ್ಲವೂ ನನ್ನದೇ. ಆದುದರಿಂದಲೇ ಪವಿತ್ರಾತ್ಮ ನಾನು ಹೇಳಿದವುಗಳಿಂದಲೇ ಆಯ್ದು ನಿಮಗೆ ತಿಳಿಯಪಡಿಸುವರೆಂದು ನಾನು ಹೇಳಿದ್ದು."

27.05.25

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 16:22-34

ಜನರ ಗುಂಪು ಅವರೊಡನೆ ಸೇರಿ ದೊಂಬಿಮಾಡಿತು. ನ್ಯಾಯಾಧಿಪತಿಗಳು ಪೌಲ ಮತ್ತು ಸೀಲರ ವಸ್ತ್ರಗಳನ್ನು ಕಿತ್ತುಹಾಕಿಸಿ ಛಡಿ ಏಟುಗಳನ್ನು ಕೊಡುವಂತೆ ಆಜ್ಞೆಮಾಡಿದರು. ಅವರನ್ನು ಚೆನ್ನಾಗಿ ಥಳಿಸಿದ ಮೇಲೆ ಸೆರೆಮನೆಯಲ್ಲಿ ಹಾಕಿ ಎಚ್ಚರಿಕೆಯಿಂದ ನೋಡಿಕೊಳ್ಳಬೇಕೆಂದು ಸೆರೆಮನೆಯ ಅಧಿಕಾರಿಗೆ ಅಪ್ಪಣೆ ವಿಧಿಸಲಾಯಿತು. ಅಂತೆಯೇ, ಆ ಅಧಿಕಾರಿ ಅವರನ್ನು ಸೆರೆಮನೆಯ ಒಳಕೋಣೆಗೆ ತಳ್ಳಿ ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಿಗಿಸಿದನು. ಸುಮಾರು ನಡುರಾತ್ರಿಯ ಸಮಯ. ಪೌಲ ಮತ್ತು ಸೀಲ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು. ಇದ್ದಕ್ಕಿದ್ದಂತೆ ಭೀಕರ ಭೂಕಂಪ ಉಂಟಾಯಿತು. ಸೆರೆಮನೆಯ ಅಸ್ತಿವಾರವೇ ಕದಲಿತು. ಆ ಕ್ಷಣವೇ ಕದಗಳೆಲ್ಲಾ ತೆರೆದುವು. ಕೈದಿಗಳೆಲ್ಲರ ಬಂಧನಗಳು ಕಳಚಿಬಿದ್ದವು. ಎಚ್ಚೆತ್ತ ಅಧಿಕಾರಿ ಸೆರೆಮನೆಯ ಬಾಗಿಲುಗಳೆಲ್ಲಾ ತೆರೆದಿರುವುದನ್ನು ಕಂಡನು. ಕೈದಿಗಳೆಲ್ಲರು ತಪ್ಪಿಸಿಕೊಂಡಿರುವರೆಂದು ಭಾವಿಸಿ ತನ್ನ ಖಡ್ಗವನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳುವುದರಲ್ಲಿದ್ದನು. ಆಗ ಪೌಲನು ಗಟ್ಟಿಯಾಗಿ ಕೂಗುತ್ತಾ, “ನೀನೇನೂ ಹಾನಿಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ,” ಎಂದನು. ಸೆರೆಮನೆಯ ಅಧಿಕಾರಿ ದೀಪವನ್ನು ತರಿಸಿ, ಒಳಗೆ ಧಾವಿಸಿ ಬಂದು, ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಪಾದಕ್ಕೆ ಬಿದ್ದನು. ಅನಂತರ ಅವರನ್ನು ಹೊರಗೆ ಕರೆತಂದು, “ಸ್ವಾಮಿಗಳೇ, ಜೀವೋದ್ಧಾರ ಪಡೆಯಲು ನಾನು ಮಾಡಬೇಕಾದುದು ಏನು?” ಎಂದು ವಿಚಾರಿಸಿದನು. “ಪ್ರಭು ಯೇಸುವಿನಲ್ಲಿ ವಿಶ್ವಾಸವಿಡು, ನೀನೂ ನಿನ್ನ ಮನೆಯವರೆಲ್ಲರೂ ಜೀವೋದ್ಧಾರವನ್ನು ಹೊಂದುವಿರಿ,” ಎಂದು ಅವರು ಉತ್ತರಕೊಟ್ಟರು. ಅನಂತರ ಪ್ರಭುವಿನ ಸಂದೇಶವನ್ನು ಅವನಿಗೂ ಅವನ ಮನೆಯಲ್ಲಿದ್ದ ಎಲ್ಲರಿಗೂ ಬೋಧಿಸಿದರು. ರಾತ್ರಿಯ ವೇಳೆಯಲ್ಲೇ ಸೆರೆಮನೆಯ ಅಧಿಕಾರಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು. ಅನಂತರ ಅವನೂ ಅವನ ಕುಟುಂಬದವರೂ ದೀಕ್ಷಾಸ್ನಾನವನ್ನು ಪಡೆದರು. ಬಳಿಕ ಪೌಲ ಮತ್ತು ಸೀಲರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಬಡಿಸಿದನು. ದೇವರಲ್ಲಿ ವಿಶ್ವಾಸವಿಡುವ ಸದವಕಾಶ ದೊರಕಿದ್ದಕ್ಕಾಗಿ ಅವನೂ ಅವನ ಮನೆಯವರೆಲ್ಲರೂ ಉಲ್ಲಾಸಗೊಂಡರು.

ಕೀರ್ತನೆ: 138:1-2, 2-3, 7-8
ಶ್ಲೋಕ: ಇಕ್ಕಟಿನಲ್ಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭೂ ಪ್ರಾಣವನು.

ಹೃದಯಪೂರ್ವಕ ವಂದನೆ ಪ್ರಭು ನಿನಗೆ I
ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ II
ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I
ನಿನ್ನ ಪ್ರೀತಿಸತ್ಯತೆಗಳನಾಮ ನುಡಿಗಳ ಮಹತ್ವದ ಪ್ರಯುಕ್ತ II

ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I
ನಿನ್ನ ಪ್ರೀತಿಸತ್ಯತೆಗಳನಾಮ ನುಡಿಗಳ ಮಹತ್ವದ ಪ್ರಯುಕ್ತ II
ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು I
ಅಧಿಕಮಾಡಿದೆ ನೀನು ನನ್ನಾತ್ಮ ಶಕ್ತಿಯನು II

ಇಕ್ಕಟ್ಟಿನಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭುಪ್ರಾಣವನು I
ಶತ್ರುಕೋಪಕೆ ವಿರುದ್ಧವಾಗಿ ತೋರುವೆ ನೀ ಮುಷ್ಟಿಯನು II
ಸಿದ್ಧಿಗೆ ತರುವೆ ನೀ ಪ್ರಭುನನ್ನ ಕಾರ್ಯವನು I
ಶಾಶ್ವತವಾಗಿಸು ನಿನ್ನ ಅಚಲ ಪ್ರಿತಿಯನು I
ಮರೆತುಬಿಡಬೇಡ ನಿನ್ನಯ ಕೈ ಕೃತಿಯನು II

ಯೊವಾನ್ನ 16:5-11


“ನಾನು ನಿಮ್ಮ ಸಂಗಡ ಇದ್ದುದರಿಂದ ಇದನ್ನೆಲ್ಲಾ ಮೊದಲೇ ನಿಮಗೆ ತಿಳಿಸಲಿಲ್ಲ. ಈಗಲಾದರೋ ನನ್ನನ್ನು ಕಳುಹಿಸಿದಾತನಲ್ಲಿಗೆ ನಾನು ತೆರಳುತ್ತೇನೆ. ನಾನು ಹೋಗುವುದು ಎಲ್ಲಿಗೆ ಎಂದು ನೀವು ಯಾರೂ ಕೇಳುತ್ತಿಲ್ಲವಾದರೂ ಇದನ್ನೆಲ್ಲಾ ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ. ವಾಸ್ತವವಾಗಿ ಹೇಳುವುದಾದರೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ, ಪೋಷಕ ನಿಮ್ಮಲ್ಲಿಗೆ ಬರುವುದಿಲ್ಲ. ನಾನು ಹೋದರೆ ಮಾತ್ರ ಅವರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡಬಲ್ಲೆ. ಆ ಪೋಷಕ ಬಂದು ಪಾಪ, ನ್ಯಾಯನೀತಿ, ಮತ್ತು ಅಂತಿಮತೀರ್ಪು ಇವುಗಳನ್ನು ಕುರಿತು ಲೋಕದ ಜನತೆ ತಾಳಿದ್ದ ತಪ್ಪುಭಾವನೆಗಳನ್ನು ಮನವರಿಕೆ ಮಾಡಿಕೊಡುವರು. ಪಾಪದ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ಅವರು ನನ್ನಲ್ಲಿ ವಿಶ್ವಾಸ ಇಡಲಿಲ್ಲ. ನ್ಯಾಯನೀತಿಯ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ನಾನು ಪಿತನ ಬಳಿಗೆಹೋಗುತ್ತೇನೆ ಮತ್ತು ನೀವು ನನ್ನನ್ನು ಕಾಣಲಾರಿರಿ. ಅಂತಿಮ ತೀರ್ಪಿನ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ಇಹದ ಲೋಕಾಧಿಪತಿಗೆ ಈಗಾಗಲೇ ನ್ಯಾಯತೀರ್ಪನ್ನು ಕೊಡಲಾಗಿದೆ.

26.05.25 - "ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 16:11-15

ನಾವು ತ್ರೋವದಲ್ಲಿ ಹಡಗು ಹತ್ತಿ ಸಮೊಥ್ರಕ್ಕೆ ನೇರವಾಗಿ ಪ್ರಯಾಣಮಾಡಿದೆವು. ಮಾರನೆಯ ದಿನ ನೆಯಫೋಲನ್ನು ತಲುಪಿ, ಅಲ್ಲಿಂದ ಮಕೆದೋನಿಯದ ಪ್ರಮುಖ ಪಟ್ಟಣವಾದ ಫಿಲಿಪ್ಪಿಗೆ ಬಂದೆವು. ಇದು ರೋಮಿನ ವಸಾಹತು; ಇಲ್ಲಿ ಕೆಲವು ದಿನಗಳನ್ನು ಕಳೆದೆವು. ಪಟ್ಟಣದ ಹೊರಗಿರುವ ನದಿತೀರದ ಬಳಿ ಯೆಹೂದ್ಯರ ಪ್ರಾರ್ಥನಾ ಸ್ಥಳವಿರಬಹುದೆಂದು ಭಾವಿಸಿ ಸಬ್ಬತ್ದಿನ ಅಲ್ಲಿಗೆ ಹೋದೆವು. ನಾವು ಕುಳಿತುಕೊಂಡು ಅಲ್ಲಿ ಸೇರಿದ್ದ ಮಹಿಳೆಯರೊಡನೆ ಸಂಭಾಷಿಸಿದೆವು. ನಮ್ಮ ಬೋಧನೆಯನ್ನು ಕೇಳಿದ ಆ ಮಹಿಳೆಯರಲ್ಲಿ ಲಿಡಿಯ ಎಂಬವಳು ಒಬ್ಬಳು. ಈಕೆ ಥುವತೈರ ಎಂಬ ಊರಿನವಳು; ಪಟ್ಟೆಪೀತಾಂಬರಗಳ ವ್ಯಾಪಾರಿ ಹಾಗೂ ದೇವಭಕ್ತೆ. ಪೌಲನ ಬೋಧನೆಗೆ ಕಿವಿಗೊಟ್ಟು ಗ್ರಹಿಸುವಂತೆ ಪ್ರಭು ಆಕೆಯ ಹೃದಯವನ್ನು ತೆರೆದರು. ಅಂತೆಯೇ ತನ್ನ ಮನೆಯವರ ಸಮೇತ ದೀಕ್ಷಾಸ್ನಾನವನ್ನು ಪಡೆದಳು. ಅನಂತರ, “ನಾನು ಪ್ರಭುವಿನ ನಿಜವಾದ ವಿಶ್ವಾಸಿಯೆಂದು ನೀವು ಒಪ್ಪಿಕೊಳ್ಳುವುದಾದರೆ ನನ್ನ ಮನೆಗೆ ಬಂದು ತಂಗಿರಿ,” ಎಂದು ನಮ್ಮನ್ನು ಒತ್ತಾಯಪೂರ್ವಕವಾಗಿ ಆಹ್ವಾನಿಸಿದಳು.

ಕೀರ್ತನೆ: 149:1-2, 3-4, 5-6, 9
ಶ್ಲೋಕ: ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು!

ಹಾಡಿರಿ ಪ್ರಭುವಿಗೆ ನೂತನ ಕೀರ್ತನೆಯನು I
ಭಕ್ತರ ಸಭೆಯಲಿ ಸ್ತುತಿಮಾಡಿರಿ ಆತನನು II
ಆನಂದಿಸಲಿ ತಮ್ಮ ಸೃಷ್ಟಿಕರ್ತನಲಿ ಇಸ್ರಯೇಲರು I
ತಮ್ಮಾ ರಾಜನಿಗೆ ಜಯಕಾರ ಮಾಡಲಿ ಸಿಯೋನಿನವರು II

ಆತನ ನಾಮವನು ಕೀರ್ತಿಸಲಿ ಕುಣಿತದಿಂದ I
ಆತನನು ಭಜಿಸಲಿ ತಮಟೆಕಿನ್ನರಿಗಳಿಂದ II
ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು I
ಜಯಶೀಲರನ್ನಾಗಿಸುತ್ತಾನೆ ದೀನದಲಿತರನು

ಹಿಗ್ಗಲಿ ಭಕ್ತಾದಿಗಳು ದೊರೆತ ವಿಜಯದಲಿ I
ಜಯಕಾರ ಮಾಡಲಿ ತಮ್ಮ ತಮ್ಮ ಶಿಬಿರಗಳಲಿ II
ಇರಲಿ ಪ್ರಭುವಿನ ಸ್ತೋತ್ರ ಅವರ ಬಾಯಲಿ I
ಇದು ತರಲಿ ಭಕ್ತರೆಲ್ಲರಿಗೆ ಗೌರವವನು I

ಯೊವಾನ್ನ 15:26-16:4



ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ಪಿತನಿಂದ ಹೊರಡುವ ಸತ್ಯಸ್ವರೂಪಿಯಾದ ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು. ಅವರು ಬಂದು ನನ್ನ ಪರವಾಗಿ ಸಾಕ್ಷಿನೀಡುವರು. ಅಂಥಕಾಲ ಬಂದಾಗ ಇದನ್ನೆಲ್ಲಾ ಕುರಿತು ನಾನು ನಿಮ್ಮನ್ನು ಮೊದಲೇ ಎಚ್ಚರಿಸಿದ್ದೇನೆಂದು ನೀವು ನೆನಸಿಕೊಳ್ಳುವಂತೆ ಇದನ್ನು ಹೇಳುತ್ತಿದ್ದೇನೆ."

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...