14.02.26 - “ಏಳು ಇವೆ"

 ಮೊದಲನೇ ವಾಚನ: 1 ಅರಸುಗಳು 12:26-32; 13:33-34


ಯಾರೊಬ್ಬಾಮನು ತನ್ನಲ್ಲೇ, “ರಾಜ್ಯವು ಮತ್ತೆ ದಾವೀದನ ಕುಟುಂಬದವರಿಗೆ ಆಗುವುದೋ ಏನೋ; ಜನರು ಜೆರುಸಲೇಮಿನಲ್ಲಿರುವ ಸರ್ವೇಶ್ವರನ ಆಲಯಕ್ಕೆ ಬಲಿಯರ್ಪಣೆಗಾಗಿ ಹೋದರೆ ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಬಾಮನ ಕಡೆಗೆ ತಿರುಗಬಹುದು; ಅವರು ನನ್ನನ್ನು ಕೊಂದು ಅವನ ಬಳಿಗೆ ಹೋಗಬಹುದು,” ಎಂದುಕೊಂಡನು. ಬಹಳವಾಗಿ ಆಲೋಚಿಸಿ, ಕಡೆಗೆ ಬಂಗಾರದ ಎರಡು ಹೋರಿಕರುಗಳ ಮೂರ್ತಿಗಳನ್ನು ಮಾಡಿಸಿ, ಇಸ್ರಯೇಲರಿಗೆ, “ನೀವು ಜಾತ್ರೆಗಾಗಿ ಜೆರುಸಲೇಮಿಗೆ ಹೋದದ್ದು ಇನ್ನು ಸಾಕು. ಇಗೋ, ನಿಮ್ಮನ್ನು ಈಜಿಪ್ಟಿನಿಂದ ಕರೆದು ತಂದ ದೇವರುಗಳು ಇಲ್ಲಿರುತ್ತವೆ,” ಎಂದು ಹೇಳಿ ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿದನು; ಇನ್ನೊಂದನ್ನು ದಾನಿಗೆ ಕಳುಹಿಸಿದನು. ಇದು ಪಾಪಕ್ಕೆ ಕಾರಣವಾಯಿತು. ಜನರು ಈ ಎರಡನೆಯ ವಿಗ್ರಹವನ್ನು ಮೆರವಣಿಗೆಯಿಂದ ದಾನಿಗೆ ಒಯ್ದರು. ಇದಲ್ಲದೆ, ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ, ಲೇವಿಯರಲ್ಲದ ಜನ ಸಾಮಾನ್ಯರನ್ನು ಯಾಜಕರನ್ನಾಗಿ ನೇಮಿಸಿದನು. ಅವನು ಎಂಟನೆಯ ತಿಂಗಳ ಹದಿನೈದನೆಯ ದಿವಸ, ನಾಡಿನ ಜಾತ್ರೆಗೆ ಸಮನಾದ ಜಾತ್ರೆ ಬೇತೇಲಿನಲ್ಲಿ ನಡೆಯಬೇಕೆಂದು ಅಪ್ಪಣೆ ಮಾಡಿದನು. ತಾನೂ ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ್ದ ಹೋರಿಕರುಗಳ ಮೂರ್ತಿಗಳಿಗೆ, ಪೀಠದ ಮೇಲೆ ಬಲಿ ಅರ್ಪಿಸಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು. ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ ಪದೇ ಪದೇ ಜನ ಸಾಮಾನ್ಯರನ್ನು ಉನ್ನತಸ್ಥಾನಗಳಿಗೆ ನೇಮಿಸಿದನು; ಮನಸ್ಸಿಗೆ ಬಂದವರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು. ಈ ಕಾರಣ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ವಿಸರ್ಜಿತರಾಗಿ ನಿರ್ನಾಮವಾದರು.


ಕೀರ್ತನೆ: 106:6-7, 19-20, 21-22

ಶ್ಲೋಕ: ಮರೆಯಬೇಡೆನ್ನನು ಪ್ರಭೂ, ನಿನ್ನ ಪ್ರಜೆಗೆ ದಯೆತೋರುವಾಗ


1.  ನಮ್ಮ ಪಿತೃಗಳಂತೆಯೇ ಪಾಪಿಗಳು ನಾವು|
ಅಕ್ರಮಗೈದೆವು, ಅಪರಾಧಿಗಳಾದೆವು||
ಗ್ರಹಿಸಲಿಲ್ಲಾ ಪಿತೃಗಳು ನಿನ್ನದ್ಭುತಗಳನ್ನು ಈಜಿಪ್ಟಿನಲಿ|
ಸ್ಮರಿಸಲಿಲ್ಲ ಅವರು ನಿನ್ನಚಲ ಪ್ರೇಮಾತಿಶಯಗಳನು ಅಲ್ಲಿ||
ಶ್ಲೋಕ

2.  ಹೋರೇಬಿನಲಿ ಮಾಡಿದರು ಬಸವನನು|
ಆರಾಧಿಸಿದರು ಆ ಎರಕದ ಶಿಲೆಯನು||
ಈ ಪರಿ ತೊರೆದುಬಿಟ್ಟರು ತಮ್ಮ ಮಹಿಮಾ ದೇವರನು|
ಆರಿಸಿಕೊಂಡರು ಹುಲ್ಲು ತಿನ್ನುವ ಬಸವನ ವಿಗ್ರಹವನು||
ಶ್ಲೋಕ

3.  ಮರೆತುಬಿಟ್ಟರವರು ತಮ್ಮ ಮುಕ್ತಿದಾತ ದೇವನನು|
ಈಜಿಪ್ಟಿನಲ್ಲಾತ ಎಸಗಿದ ಮಹತ್ಕಾರ್ಯಗಳನು||
ಹಾಮ ನಾಡಿನಲಿ ಮಾಡಿದ ಅದ್ಭುತಗಳನು|
ಕೆಂಗಡಲ ಬಳಿ ನಡೆದ ಘೋರ ಕೃತ್ಯಗಳನು||
ಶ್ಲೋಕ

ಘೋಷಣೆ
(ಯೊವಾನ್ನ 14:23)

ಅಲ್ಲೆಲೂಯ, ಅಲ್ಲೆಲೂಯ!
ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು | ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು ||
ಅಲ್ಲೆಲೂಯ!


ಶುಭಸಂದೇಶ: ಮಾರ್ಕ 8:1-10

ಜನರು ಪುನಃ ದೊಡ್ಡ ಸಂಖ್ಯೆಯಲ್ಲಿ ಬಂದು ನೆರೆದಿದ್ದರು. ಊಟಮಾಡಲು ಅವರಲ್ಲಿ ಆಹಾರವಿರಲಿಲ್ಲ. ಆಗ ಯೇಸುಸ್ವಾಮಿ ಶಿಷ್ಯರನ್ನು ಕರೆದು, “ಈ ಜನರು ಕಳೆದ ಮೂರು ದಿನಗಳಿಂದಲೂ ನನ್ನ ಬಳಿ ಇದ್ದಾರೆ; ಊಟಕ್ಕೆ ಇವರಲ್ಲಿ ಏನೂ ಇಲ್ಲ. ಇವರನ್ನು ಕಂಡಾಗ ನನ್ನ ಹೃದಯ ಕರಗುತ್ತದೆ. ಬರೀ ಹೊಟ್ಟೆಯಲ್ಲಿ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು. ಕೆಲವರಂತೂ ಬಹುದೂರದಿಂದ ಬಂದಿದ್ದಾರೆ,” ಎಂದರು. ಅದಕ್ಕೆ ಶಿಷ್ಯರು, “ಇಷ್ಟು ದೊಡ್ಡ ಗುಂಪಿಗೆ ಆಗುವಷ್ಟು ರೊಟ್ಟಿಯನ್ನು ಈ ಅಡವಿಯಲ್ಲಿ ನಾವು ತರುವುದಾದರೂ ಎಲ್ಲಿಂದ?” ಎಂದು ಮರುನುಡಿದರು. ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಲು ಅವರು, “ಏಳು ಇವೆ,” ಎಂದರು. ಯೇಸು ಜನರ ಗುಂಪಿಗೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಆಜ್ಞಾಪಿಸಿದರು. ಅನಂತರ ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಸಲ್ಲಿಸಿ, ಅವುಗಳನ್ನು ಮುರಿದು, ಜನರ ಗುಂಪಿಗೆ ಬಡಿಸಲು ಶಿಷ್ಯರಿಗೆ ಕೊಟ್ಟರು. ಅವರು ಬಡಿಸಿದರು. ಅವರಲ್ಲಿ ಕೆಲವು ಸಣ್ಣ ವಿೂನುಗಳಿದ್ದವು. ಯೇಸು ಅವುಗಳಿಗಾಗಿಯೂ ದೇವಸ್ತುತಿಮಾಡಿ ಅವುಗಳನ್ನು ಹಂಚಬೇಕೆಂದು ಆಜ್ಞಾಪಿಸಿದರು. ಜನರೆಲ್ಲರೂ ಉಂಡು ತೃಪ್ತರಾದರು. ಉಳಿದ ರೊಟ್ಟಿಯ ತುಂಡುಗಳನ್ನು ಒಟ್ಟುಗೂಡಿಸಿದಾಗ ಅವು ಏಳು ಕುಕ್ಕೆಗಳ ತುಂಬ ಆದುವು. ಊಟ ಮಾಡಿದವರ ಸಂಖ್ಯೆ ನಾಲ್ಕು ಸಾವಿರ. ಊಟವಾದ ಬಳಿಕ ಯೇಸು ಜನರನ್ನು ಕಳುಹಿಸಿಕೊಟ್ಟು, ವಿಳಂಬಮಾಡದೆ ದೋಣಿಯನ್ನು ಹತ್ತಿ, ಶಿಷ್ಯರೊಡನೆ ದಲ್ಮನೂಥ ಎಂಬ ಪ್ರದೇಶಕ್ಕೆ ಹೋದರು.

13.02.26 - ‘ಎಪ್ಫಥಾ’ ಎಂದರೆ ‘ತೆರೆಯಲಿ’ ಎಂದರು

 ಮೊದಲನೇ ವಾಚನ: 1 ಅರಸುಗಳು 11:29-32; 12:19




ಒಂದು ದಿವಸ ಯಾರೊಬ್ಬಾಮನು ಜೆರುಸಲೇಮಿನಿಂದ ಎಲ್ಲಿಗೋ ಹೋಗುತ್ತಿರುವಾಗ ಅಡವಿಯಲ್ಲಿ ಶಿಲೋವಿನವನಾದ ಅಹೀಯನೆಂಬ ಪ್ರವಾದಿ ಅವನಿಗೆ ಎದುರಾದನು. ಇವನು ಹೊಸ ಬಟ್ಟೆಯನ್ನು ಹೊದ್ದುಕೊಂಡಿದ್ದನು. ಅಲ್ಲಿ ಇವರಿಬ್ಬರ ಹೊರತಾಗಿ ಬೇರೆ ಯಾರೂ ಇರಲಿಲ್ಲ. ಆಗ ಅಹೀಯನು, ತಾನು ಹೊದ್ದುಕೊಂಡಿದ್ದ ಹೊಸ ಬಟ್ಟೆಯನ್ನು ತೆಗೆದುಕೊಂಡು, ಅದನ್ನು ಹರಿದು ಹನ್ನೆರಡು ತುಂಡುಮಾಡಿ, ಯಾರೊಬ್ಬಾಮನಿಗೆ, “ನೀನು ಇವುಗಳಲ್ಲಿ ಹತ್ತು ತುಂಡುಗಳನ್ನು ತೆಗೆದುಕೋ. ಇಸ್ರಯೇಲ್ ದೇವರಾದ ಸರ್ವೇಶ್ವರ ರಾಜ್ಯವನ್ನು ಸೊಲೊಮೋನನಿಂದ ಕಿತ್ತುಕೊಂಡು ತನ್ನ ದಾಸ ದಾವೀದನ ನಿಮಿತ್ತ ಹಾಗು ತಾವು ಇಸ್ರಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಜೆರುಸಲೇಮ್ ಪಟ್ಟಣದ ನಿಮಿತ್ತ ಅವನಿಗೆ ಒಂದೇ ಒಂದು ಕುಲವನ್ನು ಉಳಿಸಿ, ಬೇರೆ ಹತ್ತು ಕುಲಗಳನ್ನು ನಿನಗೆ ಕೊಡುತ್ತೇನೆಂದು ಹೇಳಿದ್ದಾರೆ. ಎಂದನು.  ಇಸ್ರಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ.

ಕೀರ್ತನೆ: 81:10-11, 12-13, 14-15

ಶ್ಲೋಕ: ನನ್ನ ಜನರೇ, ಕಿವಿಗೊಡಿ ನನ್ನ ಬುದ್ಧಿಮಾತಿಗೆ

ಶುಭಸಂದೇಶ: ಮಾರ್ಕ 7:31-37


ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಸಿದೋನಿನ ಮಾರ್ಗವಾಗಿ ದೆಕಪೊಲಿ ಪ್ರದೇಶವನ್ನು ಹಾದು ಗಲಿಲೇಯ ಸರೋವರದ ತೀರಕ್ಕೆ ಹಿಂದಿರುಗಿದರು. ಮಾತನಾಡಲಾಗದ ಒಬ್ಬ ಕಿವುಡನನ್ನು ಜನರು ಅವರ ಬಳಿಗೆ ಕರೆತಂದರು. ಅವನ ಮೇಲೆ ಕೈಗಳನ್ನಿಡಬೇಕೆಂದು ಬೇಡಿಕೊಂಡರು. ಯೇಸು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದೊಯ್ದು, ತಮ್ಮ ಬೆರಳುಗಳನ್ನು ಅವನ ಕಿವಿಯೊಳಗೆ ಇಟ್ಟರು. ತಮ್ಮ ಉಗುಳಿನಿಂದ ಅವನ ನಾಲಗೆಯನ್ನು ಮುಟ್ಟಿದರು. ಬಳಿಕ ಸ್ವರ್ಗದತ್ತ ಕಣ್ಣೆತ್ತಿ ನೋಡಿ, ದೀರ್ಘವಾಗಿ ಉಸಿರೆಳೆದು, ‘ಎಪ್ಫಥಾ’ ಎಂದರೆ ‘ತೆರೆಯಲಿ’ ಎಂದರು. ತಕ್ಷಣವೇ ಅವನ ಕಿವಿಗಳು ತೆರೆದವು; ನಾಲಗೆಯ ಬಿಗಿ ಸಡಿಲಗೊಂಡಿತು; ಅವನು ಸರಾಗವಾಗಿ ಮಾತನಾಡತೊಡಗಿದನು. ಇದನ್ನು ಯಾರಿಗೂ ಹೇಳಕೂಡದೆಂದು ಯೇಸು ಜನರಿಗೆ ಕಟ್ಟಪ್ಪಣೆ ಮಾಡಿದರು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಆಸಕ್ತಿಯಿಂದ ಈ ಕಾರ್ಯವನ್ನು ಪ್ರಚಾರ ಮಾಡಿದರು. ಎಲ್ಲರೂ ಆಶ್ಚರ್ಯಭರಿತರಾಗಿ, “ಇವರು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರಲ್ಲಾ!” ಎಂದುಕೊಳ್ಳುತ್ತಿದ್ದರು.

12.02.2026 - “ಚೆನ್ನಾಗಿ ಹೇಳಿದೆ, ನಿಶ್ಚಿಂತೆಯಿಂದ ಮನೆಗೆ ಹಿಂದಿರುಗು. ದೆವ್ವ ನಿನ್ನ ಮಗಳನ್ನು ಬಿಟ್ಟು ತೊಲಗಿದೆ,”

 ಮೊದಲನೇ ವಾಚನ: 1 ಅರಸುಗಳು 11:4-13


ಸೊಲೊಮೋನನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯ ದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿಟ್ಟಿದ್ದ ಯಥಾರ್ಥ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ. ಸಿದೋನ್ಯರ ಅಷ್ಟೋರೆತ್ ದೇವತೆಯನ್ನೂ ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನೂ ಆರಾಧಿಸತೊಡಗಿದನು. ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು; ಅವನ ತಂದೆ ದಾವೀದನು ಪೂರ್ಣ ಮನಸ್ಸಿನಿಂದ ಸರ್ವೇಶ್ವರನನ್ನು ಸೇವೆ ಮಾಡಿದಂತೆ ಅವನು ಸೇವೆ ಮಾಡಲಿಲ್ಲ. ಅವನು ಜೆರುಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾ ಸ್ಥಳಗಳನ್ನು ಏರ್ಪಡಿಸಿದನು. ಅವನು ಜೆರುಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾ ಸ್ಥಳಗಳನ್ನು ಏರ್ಪಡಿಸಿದನು. ಈ ಪ್ರಕಾರ ಅನ್ಯ ಜನಾಂಗಗಳಿಂದ ಬಂದ ತನ್ನ ಹೆಂಡತಿಯರು ತಮ್ಮ ದೇವತೆಗಳಿಗೆ ಧೂಪಾರತಿ ಎತ್ತುವುದಕ್ಕೂ ಬಲಿ ಅರ್ಪಿಸುವುದಕ್ಕೂ ಅನುಕೂಲ ಮಾಡಿಕೊಟ್ಟನು. ಸೊಲೊಮೋನನಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರ ಎರಡು ಸಾರಿ ಕಾಣಿಸಿಕೊಂಡು, ಅನ್ಯ ದೇವತೆಗಳನ್ನು ಪೂಜಿಸಲೇಬಾರದೆಂದು ಆಜ್ಞಾಪಿಸಿದ್ದರೂ ಅವನು ಅವರ ಆಜ್ಞೆಗಳನ್ನು ಮೀರಿದನು. ಆದ್ದರಿಂದ ಸರ್ವೇಶ್ವರ ಅವನ ಮೇಲೆ ಕೋಪಗೊಂಡು, “ನೀನು ಹೀಗೆ ಮಾಡಿ ನನ್ನ ನಿಬಂಧನೆಗಳನ್ನು ವಿೂರಿದ್ದರಿಂದ ನಿನ್ನ ರಾಜ್ಯವನ್ನು ಕಿತ್ತುಕೊಂಡು ನಿನ್ನ ದಾಸನಿಗೆ ಕೊಡುವೆನು. ಆದರೂ ನಾನು ನಿನ್ನ ತಂದೆ ದಾವೀದನನ್ನು ಸ್ಮರಿಸಿ, ನಿನ್ನ ಕಾಲದಲ್ಲಿ ಇದನ್ನು ಮಾಡುವುದಿಲ್ಲ. ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು. ಆದರೆ ಇಡೀ ಸಾಮ್ರಾಜ್ಯವನ್ನು ಕಿತ್ತುಕೊಳ್ಳುವುದಿಲ್ಲ; ನನ್ನ ದಾಸ ದಾವೀದನ ನಿಮಿತ್ತ ಹಾಗು ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣದ ನಿಮಿತ್ತ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು,” ಎಂದು ಸರ್ವೇಶ್ವರ ಹೇಳಿದರು.

ಕೀರ್ತನೆ: 106:3-4, 35-36, 37, 40

ಶ್ಲೋಕ: ಮರೆಯಬೇಡೆನ್ನನು ಪ್ರಭೂ, ನಿನ್ನ ಪ್ರಜೆಗೆ ದಯೆತೋರುವಾಗ


ಶ್ಲೋಕ:  ಮರೆಯಬೇಡೆನ್ನನು ಪ್ರಭೂ, ನಿನ್ನ ಪ್ರಜೆಗೆ ದಯೆತೋರುವಾಗ"

1.  ನ್ಯಾಯದಂತೆ ನಡೆಯುವವರು ಧನ್ಯರು|
ಅವಿರತವಾಗಿ ನೀತಿವಂತರು ಧನ್ಯರು||
ಮರೆಯಬೇಡೆನ್ನನು ಪ್ರಭೂ, ನಿನ್ನ ಪ್ರಜೆಗೆ ದಯೆತೋರುವಾಗ|
ನೆರವು ನೀಡೆನಗೆ ಸ್ವಾಮಿ, ನೀನಾ ಜನರನು ಉದ್ಧರಿಸುವಾಗ||
ಶ್ಲೋಕ

2.  ಅನ್ಯಜನರೊಡನವರು ಕಲೆತು ಬೆರೆತುಹೋದರು|
ಅವರ ದುರಾಚಾರಗಳನ್ನೂ ಕಲಿತುಕೊಂಡರು||
ಪೂಜೆಮಾಡಿದರು ಆ ಜನರ ವಿಗ್ರಹಗಳಿಗೆ|
ಉರುಲಾದವು ಆ ವಿಗ್ರಹಗಳೇ ಅವರಿಗೆ||
ಶ್ಲೋಕ

3.  ತಮ್ಮ ಪುತ್ರಪುತ್ರಿಯರನೇ ಅರ್ಪಿಸಿದರು|
ದೆವ್ವಭೂತಗಳಿಗೆ ಅವರು ಬಲಿಕೊಟ್ಟರು||
ಕೆರಳಿತು ಕೋಪ ಆ ಜನರ ಮೇಲೆ ಪ್ರಭುವಿಗೆ|
ತನ್ಯವರಾ ನಡತೆ ಅಸಹ್ಯವಾಯಿತು ಆತನಿಗೆ||
ಶ್ಲೋಕ

🌻✝️🌻

ಘೋಷಣೆ
ಲೂಕ 8:15

ಅಲ್ಲೆಲೂಯ, ಅಲ್ಲೆಲೂಯ!
ಸಜೀವವನ್ನು ಕೊಡುವಂಥದ್ದು ದೇವರ ಆತ್ಮವೇ | ನಿತ್ಯಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ ||
ಅಲ್ಲೆಲೂಯ!


ಶುಭಸಂದೇಶ: ಮಾರ್ಕ 7:24-30


ಯೇಸುಸ್ವಾಮಿ ಅಲ್ಲಿಂದ ಹೊರಟು ಟೈರ್ ಹಾಗೂ ಸಿದೋನ್ ಪಟ್ಟಣಗಳ ಸಮೀಪವಿದ್ದ ಪ್ರದೇಶಕ್ಕೆ ಹೋಗಿ ಒಂದು ಮನೆಯಲ್ಲಿ ಇಳಿದುಕೊಂಡರು. ತಾವು ಜನರ ಕಣ್ಣಿಗೆ ಬೀಳಬಾರದೆಂಬುದು ಅವರ ಇಚ್ಛೆಯಾಗಿದ್ದರೂ ಅದು ಸಾಧ್ಯವಾಗಲಿಲ್ಲ. ಹೊರನಾಡಾದ ಸಿರಿಯ ದೇಶದ ಫೆನಿಷ್ಯ ಪ್ರಾಂತ್ಯಕ್ಕೆ ಸೇರಿದ ಗ್ರೀಕ್ ಮಹಿಳೆ ಒಬ್ಬಳು ಅವರ ವಿಷಯವನ್ನು ಕೇಳಿ, ಒಡನೆ ಅಲ್ಲಿಗೆ ಬಂದು ಅವರ ಪಾದಕ್ಕೆರಗಿದಳು. ಆಕೆಯ ಚಿಕ್ಕಮಗಳಿಗೆ ದೆವ್ವ ಹಿಡಿದಿತ್ತು. ತನ್ನ ಮಗಳಿಂದ ಪಿಶಾಚಿಯನ್ನು ಹೊರಗಟ್ಟಬೇಕೆಂದು ಆಕೆ ಯೇಸುವನ್ನು ಬೇಡಿಕೊಂಡಳು. ಆದರೆ ಯೇಸು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಪಡೆಯಲಿ, ಮಕ್ಕಳ ಆಹಾರವನ್ನು ನಾಯಿಗಳಿಗೆ ಎಸೆಯುವುದು ಸರಿಯಲ್ಲ,” ಎಂದರು. ಅದಕ್ಕೆ ಆಕೆ, “ಅದು ನಿಜ ಸ್ವಾವಿೂ; ಆದರೂ ಮಕ್ಕಳು ತಿಂದುಬಿಟ್ಟ ಚೂರುಪಾರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನುತ್ತವಲ್ಲವೆ?” ಎಂದಳು. ಆಕೆಯ ಮಾತುಗಳನ್ನು ಕೇಳಿ ಯೇಸು, “ಚೆನ್ನಾಗಿ ಹೇಳಿದೆ, ನಿಶ್ಚಿಂತೆಯಿಂದ ಮನೆಗೆ ಹಿಂದಿರುಗು. ದೆವ್ವ ನಿನ್ನ ಮಗಳನ್ನು ಬಿಟ್ಟು ತೊಲಗಿದೆ,” ಎಂದರು. ಆಕೆ ಮನೆಗೆ ಹೋದಾಗ, ಮಗಳು ಹಾಸಿಗೆಯ ಮೇಲೆ ಸುಖವಾಗಿ ಮಲಗಿರುವುದನ್ನು ಕಂಡಳು. ದೆವ್ವ ಅವಳನ್ನು ಬಿಟ್ಟು ಹೋಗಿತ್ತು. 

11.02.2026 - ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ

 ಮೊದಲನೇ ವಾಚನ: 1 ಅರಸುಗಳು 10:1-10


ಸರ್ವೇಶ್ವರನ ನಾಮ ಮಹತ್ತಿನಿಂದ ಸೊಲೊಮೋನನ ಕೀರ್ತಿ ಹರಡಿತು. ಇದನ್ನು ಕೇಳಿದ ಶೆಬದ ರಾಣಿ ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕೆ ಬಂದಳು. ಆಕೆ ಸುಗಂಧ ದ್ರವ್ಯ, ಅಪರಿಮಿತವಾದ ಬಂಗಾರ, ರತ್ನ, ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಜೆರುಸಲೇಮಿಗೆ ಬಂದಳು. ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು. ಸೊಲೊಮೋನನು ಆಕೆಯ ಎಲ್ಲಾ ಪ್ರಶ್ನೆಗಳಿಗೆ ಉತ್ತರಕೊಟ್ಟನು; ಅರಸನಿಗೆ ಬಿಡಿಸಲು ಕ್ಷಿಷ್ಟವಾದ ಒಗಟು ಒಂದೂ ಇರಲಿಲ್ಲ. ಶೆಬದ ರಾಣಿ ಸೊಲೊಮೋನನ ಹಲವಿಧವಾದ ಜ್ಞಾನೋಕ್ತಿಗಳನ್ನು ಕೇಳಿದಳು; ಅವನು ಕಟ್ಟಿಸಿದ ಅರಮನೆ, ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನು ಮತ್ತು ಸರ್ವೇಶ್ವರನ ಆಲಯದಲ್ಲಿ ಅವನು ಸಮರ್ಪಿಸುತ್ತಿದ್ದ ದಹನಬಲಿಗಳನ್ನು ನೋಡಿದಳು. ಇವುಗಳಿಂದ ಆಶ್ಚರ್ಯಚಕಿತಳಾಗಿ, “ನಾನು ನನ್ನ ದೇಶದಲ್ಲಿ ನಿಮ್ಮ ಜ್ಞಾನವನ್ನೂ ಸಾಧನೆಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ. ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕೆ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ ನಿಮ್ಮ ಜ್ಞಾನ ವೈಭವಗಳು, ನಾನು ಕೇಳಿದ್ದಕ್ಕಿಂತ ಮಿಗಿಲಾಗಿವೆ. ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ವರದಿ ಮಾಡಿರಲಿಲ್ಲ. ನಿಮ್ಮ ಪ್ರಜೆಗಳು ಭಾಗ್ಯವಂತರು! ಸದಾ ನಿಮ್ಮ ಸನ್ನಿಧಿಯಲ್ಲಿದ್ದು ನಿಮ್ಮ ಜ್ಞಾನ ವಾಕ್ಯಗಳನ್ನು ಕೇಳುವ ನಿಮ್ಮ ಸೇವಕರು ಧನ್ಯರು! ನಿಮ್ಮನ್ನು ಮೆಚ್ಚಿ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ಇಸ್ರಯೇಲರನ್ನು ಸದಾ ಪ್ರೀತಿಸುವವರಾಗಿರುವುದರಿಂದ ಆ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನು ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು. ಆಕೆ ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂಗೂ ಹೆಚ್ಚು ಬಂಗಾರವನ್ನು, ಅಪರಿಮಿತ ಸುಗಂಧದ್ರವ್ಯವನ್ನು ಹಾಗು ರತ್ನಗಳನ್ನು ಕೊಟ್ಟಳು. ಶೆಬದ ರಾಣಿ ಅರಸ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಬೇರೆ ಯಾರೂ ಈ ನಾಡಿಗೆ ಕೊಟ್ಟಿರಲಿಲ್ಲ.

ಕೀರ್ತನೆ
37:5-6,30-31,39-40. v. 30

ಶ್ಲೋಕ:  ಸಜ್ಜನರ ಬಾಯಿ ಆಡುವುದು ಸುಜ್ಞಾನವನು.

1.  ಪ್ರಭುವಿಗೆ ಬಿಡು ನಿನ್ನ ಜೀವನಯಾತ್ರ ಚಿಂತೆಯನು|
ಭರವಸೆಯಿಂದಿರು, ಆತನದನು ಸಾಗಿಸುವನು||
ಬೆಳಗಿಸುವನು ನಿನ್ನ ಸತ್ಯಸಂಧತೆಯನು ಸೂರ್ಯೋದಯದಂತೆ|
ಪ್ರಕಟಿಸುವನು ನಿನ್ನಾ ನ್ಯಾಯನಿಷ್ಠೆಯನು ನಡುಹಗಲಿನಂತೆ||
ಶ್ಲೋಕ

2.  ಸಜ್ಜನರ ಬಾಯಿ ಆಡುವುದು ಸುಜ್ಞಾನವನು|
ಅವನ ನಾಲಿಗೆ ನುಡಿವುದು ನ್ಯಾಯನೀತಿಯನು||
ಅವನ ಎದೆಯಲ್ಲಿದೆ ದೇವರ ನಿಯಮ|
ನೆಲೆ ತಪ್ಪದು ಅವನ ನಡತೆಯ ಕ್ರಮ||
ಶ್ಲೋಕ

3.  ಸಜ್ಜನರ ಜೀವೋದ್ಧಾರ ಪ್ರಭುವಿನಿಂದ|
ಆಪತ್ಕಾಲದಲಿ ಆಶ್ರಯ ಆತನಿಂದ|
ತನ್ನ ಆಶ್ರಿತರನು ಪ್ರಭು ಕೈ ನೀಡಿ ಕಾಪಾಡುವನು|
ದುಷ್ಟರ ವಶದಿಂದವರನು ತಪ್ಪಿಸಿ ಉದ್ಧರಿಸುವನು||
ಶ್ಲೋಕ

🌹✝️🌹

ಘೋಷಣೆ
ಮತ್ತಾಯ 11:25

ಅಲ್ಲೆಲೂಯ, ಅಲ್ಲೆಲೂಯ!
ಪಿತನೇ, ಭೂಸ್ವರ್ಗಗಳ ಒಡೆಯನೇ, | ಈ ವಿಷಯಗಳನ್ನು ಮಕ್ಕಳಂಥವರಿಗೆ ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ ||
ಅಲ್ಲೆಲೂಯ!

ಶುಭಸಂದೇಶ: ಮಾರ್ಕ 7:14-23

ಅನಂತರ ಯೇಸುಸ್ವಾಮಿ ಜನರ ಗುಂಪನ್ನು ತಮ್ಮ ಬಳಿಗೆ ಕರೆದು, “ನಾನು ಹೇಳುವುದನ್ನು ನೀವೆಲ್ಲರೂ ಕೇಳಿ ಗ್ರಹಿಸಿಕೊಳ್ಳಿ: ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಕಲುಷಿಗೊಳಿಸುವುದಿಲ್ಲ. ಮನುಷ್ಯನ ಅಂತರಂಗದಿಂದ ಹೊರಬರುವಂತಹುದೇ ಅವನನ್ನು ಕಲುಷಿತಗೊಳಿಸುತ್ತದೆ. (ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ)” ಎಂದರು. ಯೇಸು ಜನರ ಗುಂಪನ್ನು ಬಿಟ್ಟು ಮನೆ ಸೇರಿದ ಬಳಿಕ ಶಿಷ್ಯರು, ಅವರ ಬಳಿಗೆ ಬಂದು ಆ ಸಾಮತಿಯ ಅರ್ಥವೇನೆಂದು ಕೇಳಿದರು. ಅದಕ್ಕೆ ಅವರು, “ನೀವು ಕೂಡ ಮಂದಮತಿಗಳೋ? ನಿಮಗೂ ಇದು ಅರ್ಥವಾಗದೋ? ಹೊರಗಿನಿಂದ ಮನುಷ್ಯನ ಒಳಕ್ಕೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ. ಅವನು ತಿಂದದ್ದು ಅವನ ಹೃದಯವನ್ನು ಹೊಕ್ಕದೆ, ಹೊಟ್ಟೆಯನ್ನು ಮಾತ್ರ ಸೇರಿ, ಬಳಿಕ ದೇಹದಿಂದ ವಿಸರ್ಜಿತವಾಗುತ್ತದೆ. (ಹೀಗೆ ಆಹಾರ ಪದಾರ್ಥಗಳು ಯಾವುವೂ ಅಶುದ್ಧವಲ್ಲವೆಂದು ಯೇಸು ಸೂಚಿಸಿದರು.) ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವ ಯೋಚನೆಗಳು ಅವನನ್ನು ಕಲುಷಿತಗೊಳಿಸುತ್ತವೆ. ಮಾನವನ ಹೃದಯಾಂತರಾಳದಿಂದ ದುರಾಲೋಚನೆ, ಅನೈತಿಕತೆ, ಕಳ್ಳತನ, ಕೊಲೆ, ವ್ಯಭಿಚಾರ, ಲೋಭ, ಕೆಡುಕುತನ, ಮೋಸ, ಭಂಡತನ, ಅಸೂಯೆ, ಅಪದೂರು, ಅಹಂಕಾರ, ಮೂರ್ಖತನ ಮೊದಲಾದವು ಹೊರಬರುತ್ತವೆ. ಈ ಎಲ್ಲಾ ಕೇಡುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ, ಅವನನ್ನು ಅಶುದ್ಧ ಮಾಡುತ್ತವೆ,” ಎಂದರು.

10.02.2026 - ತಂದೆಯನ್ನಾಗಲೀ ತಾಯಿಯನ್ನಾಗಲೀ ದೂಷಿಸುವವನಿಗೆ ಮರಣದಂಡನೆ ಆಗಲೇಬೇಕು

 ಮೊದಲನೆಯ ವಾಚನ - ಅದಿಕಾಂಡ 1: 20-2:4


ಆ ಬಳಿಕ ದೇವರು, “ಹಲವಾರು ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಭೂಮಿ ಆಕಾಶಗಳ ನಡುವೆ ಪಕ್ಷಿಗಳು ಹಾರಾಡಲಿ,” ಎಂದರು. ಈ ಪ್ರಕಾರ ದೇವರು ದೊಡ್ಡ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ನಾನಾ ವಿಧವಾದ ಜೀವಜಂತುಗಳನ್ನೂ ರೆಕ್ಕೆಗಳುಳ್ಳ ಸಕಲ ವಿಧವಾದ ಪಕ್ಷಿಗಳನ್ನೂ ಸೃಷ್ಟಿಮಾಡಿದರು. ದೇವರ ದೃಷ್ಟಿಗೆ ಅದೂ ಚೆನ್ನಾಗಿ ಕಂಡಿತು. ಅವುಗಳಿಗೆ ದೇವರು, “ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ,” ಎಂದು ಹೇಳಿ ಆಶೀರ್ವದಿಸಿದರು. ಹೀಗೆ ಬೈಗೂ ಬೆಳಗೂ ಆಗಿ ಐದನೆಯ ದಿನ ಆಯಿತು. ಆ ಬಳಿಕ ದೇವರು, “ಭೂಮಿಯಿಂದ ಎಲ್ಲ ತರದ ಜೀವಜಂತುಗಳು ಸೃಷ್ಟಿಯಾಗಲಿ. ದೊಡ್ಡ - ಚಿಕ್ಕ ಸಾಕುಪ್ರಾಣಿಗಳೂ ಕಾಡುಮೃಗಗಳೂ ಹುಟ್ಟಲಿ,“ ಎಂದರು. ಅಂತೆಯೇ ಆಯಿತು. ಎಲ್ಲ ತರದ ದೊಡ್ಡ - ಚಿಕ್ಕ ಕಾಡುಮೃಗಗಳನ್ನೂ ಸಾಕುಪ್ರಾಣಿಗಳನ್ನೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನು ದೇವರು ಸೃಷ್ಟಿಮಾಡಿದರು. ಅವರ ನೋಟಕ್ಕೆ ಅದು ಚೆನ್ನಾಗಿ ಕಂಡಿತು. ಅದಾದನಂತರ ದೇವರು, “ನಮ್ಮಂತೆಯೇ ಇರುವ ಹಾಗು ನಮ್ಮನ್ನು ಹೋಲುವ, ಮನುಷ್ಯರನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ದೊಡ್ಡ - ಚಿಕ್ಕ ಸಾಕುಪ್ರಾಣಿ ಹಾಗು ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ಮೇಲೆಯೂ ದೊರೆತನ ಮಾಡಲಿ,” ಎಂದರು. ಹೀಗೆ ದೇವರು: ಸೃಷ್ಟಿಸಿದರು ನರರನ್ನು ತಮ್ಮ ಹೋಲಿಕೆಯಲ್ಲಿ ಸೃಷ್ಟಿಸಿದರವರನ್ನು ದೇವಾನುರೂಪದಲ್ಲಿ ಸೃಷ್ಟಿಸಿದರವರನ್ನು ಸ್ತ್ರೀಪುರುಷರನ್ನಾಗಿ. ಅವರನ್ನು ದೇವರು ಆಶೀರ್ವದಿಸಿ, “ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ. ಇನ್ನೂ, ಭೂಮಿಯಲ್ಲಿರುವ ಎಲ್ಲ ತರದ ದವಸಧಾನ್ಯಗಳನ್ನೂ ಹಣ್ಣುಹಂಪಲುಗಳನ್ನೂ ನಿಮಗೆ ಆಹಾರವಾಗಿ ಕೊಟ್ಟಿದ್ದೇನೆ. ಇದಲ್ಲದೆ, ಭೂಮಿಯ ಮೇಲೆ ತಿರುಗಾಡುವ ದೊಡ್ಡ - ಚಿಕ್ಕ ಮೃಗಗಳಿಗೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳಿಗೂ ಹುಲ್ಲು ಸೊಪ್ಪುಗಳನ್ನು ಆಹಾರವಾಗಿ ಕೊಟ್ಟಿದ್ದೇನೆ,” ಎಂದು ಹೇಳಿದರು. ಹಾಗೆಯೇ ಆಯಿತು. ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು. ಪರಲೋಕ-ಭೂಲೋಕಗಳೂ ಅವುಗಳಲ್ಲಿ ಇರುವ ಸಮಸ್ತವೂ ಹೀಗೆ ನಿರ್ಮಿತವಾದವು. ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು ಆ ಏಳನೆಯ ದಿನವು ಪರಿಶುದ್ಧವಾಗಿರಲಿ ಎಂದು ಆಶೀರ್ವದಿಸಿದರು. ತಮ್ಮ ಸೃಷ್ಟಿಕಾರ್ಯವನ್ನೆಲ್ಲ ಮುಗಿಸಿ ಆ ದಿನದಂದು ವಿಶ್ರಮಿಸಿಕೊಂಡ ಕಾರಣ ಹಾಗೆ ಮಾಡಿದರು. ಇತಿ, ಪರಲೋಕ - ಭೂಲೋಕಗಳ ನಿರ್ಮಾಣ ಚರಿತ್ರೆ.
ಪ್ರಭುವಿನ ವಾಕ್ಯ

ಕೀರ್ತನೆ - 8: 3-4, 5-6, 7-8
ಹರಡಿದೆ ಪ್ರಭೂ, ನಿನ್ನ ಸಿರಿನಾಮ ಜಗದಾದ್ಯಂತ I

ಆಕಾಶಮಂಡಲ ನಿನ್ನ ಕೈಕೆಲಸವಯ್ಯಾ I
ಚಂದ್ರ ನಕ್ಷತ್ರಗಳು ನಿನ್ನ ರಚನೆಗಳಯ್ಯಾ II

ಇಂತಿರಲು, ಮನುಜನು ಎಷ್ಟರವನು ನೀನವನನು ಲಕ್ಷಿಸಲು? I
ಏತರದವನು ನರಮಾನವನು ನೀನವನನು ಪರಾಮರಿಸಲು? II

ಆದರೆ ದೇವದೂತರಿಗಿಂತ ಕಿಂಚಿತ್ತೆ ಕೀಳಾಗಿಸಿದೆ ಮನುಜನನು I
ಮುಡಿಸಿದೆ ಮುಕುಟವಾಗವನಿಗೆ ಘನಮಾನವನು, ಸಿರಿಹಿರಿಮೆಯನು II

ಒಡೆಯನಾಗಿಸಿದೆ ನಿನ್ನಯ ಕರಕೃತಿಗಳಿಗೆ I
ಒಳಪಡಿಸಿದೆ ಸಕಲವನು ಅವನ ಪಾದದಡಿಗೆ II

ಕುರಿಗಳನು, ಕರುಗಳನು, ಕಾಡುಮೃಗಗಳನು I
ಗರಿಗಳನು, ಮೀನುಗಳನು, ಜಲಚರಗಳನು I
ಕರಗತ ಮಾಡಿದೆ ನೀ ಅವನಿಗೆಲ್ಲವನು II

ಘೋಷಣೆ                  ಕೀರ್ತನೆ 145:14

ಅಲ್ಲೆಲೂಯ, ಅಲ್ಲೆಲೂಯ!
ನುಡಿಯಲಿ  ಪ್ರಭು  ಸದಾ  ಪ್ರಾಮಾಣಿಕನು,  ನಡೆಯಲಿ  ಆತನು  ಸದಾ  ಪ್ರೀತಿಮಯನು,,
ಅಲ್ಲೆಲೂಯ!

ಶುಭಸಂದೇಶ - ಮಾರ್ಕ 7: 1-13


ಆ ಕಾಲದಲ್ಲಿ ಫರಿಸಾಯರು ಮತ್ತು ಜೆರುಸಲೇಮಿನಿಂದ ಕೆಲವು ಮಂದಿ ಧರ್ಮಶಾಸ್ತ್ರಿಗಳು ಯೇಸುಸ್ವಾಮಿಯ ಬಳಿಗೆ ಬಂದು ಸೇರಿದರು. ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಎಂದರೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟ ಮಾಡುವುದನ್ನು ಅವರು ನೋಡಿದರು. ಫರಿಸಾಯರು ಇತರ ಯೆಹೂದ್ಯರಂತೆ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಊಟ ಮಾಡುವುದಿಲ್ಲ. ಇದು ಅವರ ಪೂರ್ವಜರಿಂದ ಬಂದ ಸಂಪ್ರದಾಯ. ಪೇಟೆ ಬೀದಿಗಳಿಗೆ ಹೋಗಿ ಬಂದರೆ ಸ್ನಾನ ಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ಸೂತ್ರಬದ್ಧವಾಗಿ ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದವು. ಆದುದರಿಂದ ಫರಿಸಾಯರೂ ಧರ್ಮಶಾಸ್ತ್ರಿಗಳೂ, “ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?" ಎಂದು ಯೇಸುವನ್ನು ಕೇಳಿದರು. ಅದಕ್ಕೆ ಯೇಸು, “ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ: ‘ಬರಿಯ ಮಾತಿನ ಮನ್ನಣೆಯನೀಯುತ, ಹೃದಯವನು ದೂರವಿರಿಸುತ, ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ, ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ! ಎಂದರು ದೇವರು.’ “ನೀವು ದೇವರ ಆಜ್ಞೆಯನ್ನು ತೊರೆದು ಮಾನವ ನಿರ್ಮಿತ ಸಂಪ್ರದಾಯಗಳನ್ನು ನಿಷ್ಠೆಯಿಂದ ಪರಿಪಾಲಿಸುತ್ತಿದ್ದೀರಿ. ಸಂಪ್ರದಾಯದ ನೆವದಲ್ಲಿ ದೇವರ ಆಜ್ಞೆಗಳನ್ನು ನೀವು ಜಾಣ್ಮೆಯಿಂದ ಬದಿಗೊತ್ತಿರುವುದು ಬಲು ಚೆನ್ನಾಗಿದೆ! ‘ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು; ತಂದೆಯನ್ನಾಗಲೀ ತಾಯಿಯನ್ನಾಗಲೀ ದೂಷಿಸುವವನಿಗೆ ಮರಣದಂಡನೆ ಆಗಲೇಬೇಕು,’ ಎಂಬುದು ಮೋಶೆ ವಿಧಿಸಿದ ಆಜ್ಞೆ. ನೀವಾದರೋ, ಒಬ್ಬನು ತನ್ನ ತಂದೆಗೆ ಅಥವಾ ತಾಯಿಗೆ ‘ನನ್ನಿಂದ ನಿಮಗೆ ಸಲ್ಲತಕ್ಕದ್ದು “ಕೊರ್ಬಾನ್” (ಎಂದರೆ ದೇವರಿಗೆ ಮುಡಿಪು) ಎಂದು ಹೇಳಿ ಬಿಟ್ಟರೆ ಸಾಕು, ಮುಂದೆ ಅವನು ತನ್ನ ತಂದೆತಾಯಿಗಳಿಗೆ ಯಾವ ಸಹಾಯವನ್ನೂ ಮಾಡುವುದಕ್ಕೆ ನೀವು ಬಿಡುವುದಿಲ್ಲ. “ಹೀಗೆ ನೀವು ಬೋಧಿಸುವ ಸಂಪ್ರದಾಯಗಳಿಂದಾಗಿ ದೇವರ ವಾಕ್ಯವನ್ನೇ ನಿರರ್ಥಕಗೊಳಿಸುತ್ತೀರಿ. ಇಂಥಾ ಕೃತ್ಯಗಳು ಇನ್ನೆಷ್ಟೋ!” ಎಂದರು.
ಪ್ರಭುವಿನ ಶುಭಸಂದೇಶ

09.02.2026 - ಅವರ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಯೇಸುವನ್ನು ಬೇಡಿಕೊಳ್ಳುತ್ತಿದ್ದರು. ಹಾಗೆ ಮುಟ್ಟಿದವರೆಲ್ಲರೂ ಗುಣ ಹೊಂದುತ್ತಿದ್ದರು.

 ಮೊದಲನೇ ವಾಚನ: 1 ಅರಸುಗಳು 8:1-7, 9-13


ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ದಾವೀದನಗರವಾದ ಸಿಯೋನಿನಿಂದ ದೇವಾಲಯಕ್ಕೆ ತರುವುದಕ್ಕಾಗಿ, ಇಸ್ರಯೇಲರ ಹಿರಿಯರು, ಕುಲಗಳ ನಾಯಕರು, ಇವರೇ ಮೊದಲಾದ ಎಲ್ಲ ಇಸ್ರಯೇಲ್ ಪ್ರಮುಖ ವ್ಯಕ್ತಿಗಳು ಜೆರುಸಲೇಮಿಗೆ, ತನ್ನ ಆಸ್ಥಾನಕ್ಕೆ, ಬರಬೇಕೆಂದು ಅರಸ ಸೊಲೊಮೋನನು ಆಜ್ಞಾಪಿಸಿದನು. ಅಂತೆಯೇ ಆ ಇಸ್ರಯೇಲರೆಲ್ಲರು ಏಳನೆಯ ತಿಂಗಳಾದ ಆಶ್ವಯುಜ ಮಾಸದಲ್ಲಿ ಜಾತ್ರೆಯಾಗಿ ಅರಸ ಸೊಲೊಮೋನನ ಬಳಿಗೆ ಕೂಡಿಬಂದರು. ಇಸ್ರಯೇಲರ ಹಿರಿಯರೆಲ್ಲರು ಹೀಗೆ ಕೂಡಿ ಬಂದಿರಲು ಯಾಜಕರು ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡರು. ಉಳಿದ ಯಾಜಕರೂ ಲೇವಿಯರೂ ದೇವದರ್ಶನದ ಗುಡಾರ ಹಾಗು ಅದರಲ್ಲಿದ್ದ ಪವಿತ್ರ ವಸ್ತುಗಳನ್ನು ಹೊತ್ತರು. ಅರಸ ಸೊಲೊಮೋನನು ಹಾಗು ಅಲ್ಲಿ ಕೂಡಿ ಬಂದಿದ್ದ ಎಲ್ಲ ಇಸ್ರಯೇಲರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಬಲಿದಾನ ಮಾಡಿದರು. ಯಾಜಕರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸುವ ಗರ್ಭಗುಡಿಯಲ್ಲಿ, ಕೆರೂಬಿಗಳ ರೆಕ್ಕೆಗಳ ಕೆಳಗೆ, ಅದಕ್ಕೆ ನೇಮಕವಾದ ಸ್ಥಳದಲ್ಲಿಟ್ಟರು. ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದುದರಿಂದ ಮಂಜೂಷವು ಹಾಗು ಅದರ ಕೋಲುಗಳು ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು. ಮಂಜೂಷದಲ್ಲಿ ಎರಡು ಶಿಲಾಶಾಸನಗಳನ್ನು ಬಿಟ್ಟರೆ, ಬೇರೇನೂ ಇರಲಿಲ್ಲ. ಸರ್ವೇಶ್ವರ ಈಜಿಪ್ಟಿನಿಂದ ಬಂದ ಇಸ್ರಯೇಲರೊಡನೆ ಹೋರೇಬ್ ಬೆಟ್ಟದ ಬಳಿ ಒಡಂಬಡಿಕೆ ಮಾಡಿಕೊಂಡಮೇಲೆ, ಮೋಶೆ ಆ ಶಾಸನಗಳನ್ನು ಅದರಲ್ಲಿ ಇಟ್ಟಿದ್ದನು. ಯಾಜಕರು ಆ ಪರಿಶುದ್ಧ ಸ್ಥಳದಿಂದ ಹೊರಗೆ ಬಂದಕೂಡಲೆ ಮೇಘವು ಸರ್ವೇಶ್ವರನ ಆಲಯವನ್ನು ತುಂಬಿಕೊಂಡಿತು. ಸರ್ವೇಶ್ವರನ ತೇಜಸ್ವಿನಿಂದ ವ್ಯಾಪ್ತವಾಗಿದ್ದ ಆ ಮೇಘವು ಆಲಯವನ್ನು ಆವರಿಸಿಕೊಂಡಿದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾಗಲಿಲ್ಲ. ಆಗ ಸೊಲೊಮೋನನು ಹೀಗೆಂದು ಪ್ರಾರ್ಥಿಸಿದನು: “ಹೇ ಸರ್ವೇಶ್ವರ, ರವಿಯನು ಆಗಸದಲ್ಲಿ ಸ್ಥಿರವಿರಿಸಿದ ನೀವು ಆರಿಸಿಕೊಂಡಿರಿ, ಕರಿಮೋಡದಲಿ ವಾಸಿಸಲು ನಾ ನಿರ್ಮಿಸಿರುವ ಈ ಭವ್ಯ ಮಂದಿರ ನಿಮಗಾಗಲಿ ಶಾಶ್ವತವಾದ ನಿವಾಸ.”

ಕೀರ್ತನೆ: 132:6-7, 8-10
ಶ್ಲೋಕ: ಪ್ರಭೂ, ನಿನ್ನ ವಾಸಸ್ಥಾನವನು ಬಂದು ಸೇರು ಬೇಗನೆ.

ಶುಭಸಂದೇಶ: ಮಾರ್ಕ 6:53-56


ಅವರೆಲ್ಲರು ಸರೋವರವನ್ನು ದಾಟಿ ಗೆನಸರೇತ್ ಊರಿನ ದಡ ಸೇರಿದರು. ಅವರು ದೋಣಿಯನ್ನು ಕಟ್ಟಿ, ಅದರಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುಸ್ವಾಮಿಯ ಗುರುತು ಹಚ್ಚಿದರು. ಒಡನೆ ಸುತ್ತಮುತ್ತಲೆಲ್ಲಾ ಓಡಾಡಿ, ರೋಗಿಗಳನ್ನು ಹಾಸಿಗೆಗಳ ಸಹಿತ ಹೊತ್ತುಕೊಂಡು, ಯೇಸು ಎಲ್ಲೆಲ್ಲಿ ಇದ್ದಾರೆಂದು ಕೇಳಿದರೋ ಅಲ್ಲೆಲ್ಲಾ ಹೋಗತೊಡಗಿದರು. ಯೇಸು ಹಳ್ಳಿಗಳಿಗಾಗಲಿ ಪಟ್ಟಣಪಾಳೆಯಗಳಿಗಾಗಲಿ ಹೋದಾಗಲೆಲ್ಲಾ ಜನರು ರೋಗಿಗಳನ್ನು ಅಲ್ಲಿಯ ಸಂತೆ ಬೀದಿ ಚೌಕಗಳಿಗೆ ಕರೆ ತರುತ್ತಿದ್ದರು. ಅವರ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಯೇಸುವನ್ನು ಬೇಡಿಕೊಳ್ಳುತ್ತಿದ್ದರು. ಹಾಗೆ ಮುಟ್ಟಿದವರೆಲ್ಲರೂ ಗುಣಹೊಂದುತ್ತಿದ್ದರು.

08.02.2026 - ಈ ಧರೆಗೆ ನೀವೇ ಉಪ್ಪು; ಉಪ್ಪೇ ಸಪ್ಪೆಯಾಗಿಬಿಟ್ಟರೆ ಅದಕ್ಕೆ ಇನ್ನಾವುದರಿಂದ ಪುನಃ ರುಚಿ ಬಂದೀತು?

 ಮೊದಲನೇ ವಾಚನ: ಯೆಶಾಯ 58:7-10


ಹಸಿದವರಿಗೆ ಅನ್ನ ಹಾಕುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯಾದವರನ್ನು ಕಂಡಾಗ ಅವರಿಗೆ ಬಟ್ಟೆಹೊದಿಸುವುದು, ನಿನ್ನ ರಕ್ತ ಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೆ ನನಗೆ ಇಷ್ಟಕರವಾದ ಉಪವಾಸವ್ರತ? “ಇದನ್ನು ಆಚರಿಸುವಾಗ ನೀವು ಉದಯ ಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು. ಆಗ ನೀವು ಪ್ರಾರ್ಥಿಸಿದರೆ, ಆ ಸ್ವಾಮಿ ನಿಮಗೆ ಉತ್ತರಿಸುವರು; ಮೊರೆಯಿಟ್ಟು ಕರೆದರೆ ‘ಇಗೋ ಆಲಿಸುತ್ತಿದ್ದೇನೆ’ ಎನ್ನುವರು. ನೀವು ದಬ್ಬಾಳಿಕೆ ನಡೆಸುವುದನ್ನೂ ಇತರರನ್ನು ಜರೆಯುವುದನ್ನೂ ಕೇಡನ್ನು ನುಡಿಯುವುದನ್ನೂ ನಿಮ್ಮ ನಡುವೆಯಿಂದ ತೊಲಗಿಸಿದರೆ ಹಾಗೂ ಹಸಿದವರಿಗೆ ಜೀವನಾಂಶವನ್ನೂ ಬಡವರಿಗೆ ಅಗತ್ಯವಾದುದನ್ನೂ ನೀಡಿದರೆ, ನಿಮ್ಮ ಜ್ಯೋತಿ ಕತ್ತಲಲ್ಲಿ ಬೆಳಗುವುದು; ಅಂಧಕಾರ ನೀಗಿ ಮಧ್ಯಾಹ್ನವಾಗುವುದು.

ಕೀರ್ತನೆ: 112:4-5, 6-7, 8-9
ಶ್ಲೋಕ: ಸಜ್ಜನನಿಗೆ ಮೂಡುವುದು ಜ್ಯೋತಿ ಕತ್ತಲೊಳು.

1.  ಸಜ್ಜನನಿಗೆ ಮೂಡುವುದು ಜ್ಯೋತಿ ಕತ್ತಲೊಳು|
ನ್ಯಾಯಪ್ರಿಯನು ಆತ, ದಯಾವಂತ ಕೃಪಾಳು||
ದಯೆತೋರಿ ಧನಸಹಾಯ ಮಾಡುವವನು ಭಾಗ್ಯವಂತ|
ನ್ಯಾಯದಿಂದ ವ್ಯವಹರಿಸುವಂಥಾ ಮನುಜನು ಭಾಗ್ಯವಂತ||
ಶ್ಲೋಕ

2.  ಅಚಲನಾಗಿರುವನು ನೀತಿವಂತನು|
ಮರೆಯಲಾರರು ಎಂದಿಗೂ ಆತನನು||
ಅಶುಭವಾರ್ತೆಯ ಭಯಭೀತಿ ಯಾವುದೂ ಅವನಿಗಿಲ್ಲ|
ಪ್ರಭುವಿನಲ್ಲಿ ಭರವಸೆಯಿಟ್ಟ ಆ ಮನವು ಅಸ್ಥಿರವಲ್ಲ||
ಶ್ಲೋಕ

3.  ದೃಢವಿದೆ ಅವನ ಮನ, ಎದೆಗುಂದನವನು|
ಉದಾರತೆಯಿಂದ ಕೊಡುವನು ಬಡವರಿಗೆ||
ಫಲಿಸುವುದು ಅವನಾ ನೀತಿ ಸದಾಕಾಲಕೆ|
ಮಹಿಮೆತರುವ ಕೋಡು ಮೂಡುವುದು ಅವನಿಗೆ||
ಶ್ಲೋಕ

ಎರಡನೇ ವಾಚನ: 1 ಕೊರಿಂಥಿಯರಿಗೆ 2:1-5

ಸಹೋದರರೇ, ದೇವರ ಸತ್ಯಾರ್ಥವನ್ನು ಸಾರಲು ನಿಮ್ಮಲ್ಲಿಗೆ ನಾನು ಬಂದಾಗ ವಾಕ್ಚಾತುರ್ಯವನ್ನಾಗಲಿ, ಜ್ಞಾನಾಡಂಬರವನ್ನಾಗಲಿ ಪ್ರದರ್ಶಿಸುತ್ತಾ ಬರಲಿಲ್ಲ. ನಾನು ನಿಮ್ಮೊಡನೆ ಇದ್ದಾಗ, ಯೇಸುಕ್ರಿಸ್ತರನ್ನು, ಅದೂ ಶಿಲುಬೆಗೇರಿಸಲಾದ ಯೇಸುವನ್ನು ಹೊರತು ಬೇರೆ ಯಾವುದನ್ನೂ ಅರಿಯಲು ಆಶಿಸಲಿಲ್ಲ. ಈ ಕಾರಣ, ನಾನು ನಿಮ್ಮ ನಡುವೆ ದುರ್ಬಲನೂ ಭಯಭೀತನೂ ಆಗಿದ್ದೆ. ನನ್ನ ಬೋಧನೆ ಹಾಗೂ ಮಾತುಕತೆ ಕೇವಲ ಬುದ್ಧಿವಂತಿಕೆಯಿಂದಾಗಲಿ ಮಾತಿನ ಚಮತ್ಕಾರದಿಂದಾಗಲಿ ಕೂಡಿರಲಿಲ್ಲ; ಅದಕ್ಕೆ ಬದಲಾಗಿ ದೇವರ ಆತ್ಮವನ್ನು, ಅವರ ಶಕ್ತಿಯನ್ನು ಸಮರ್ಥಿಸುತ್ತಿದ್ದವು. ಅಂತೆಯೇ ನಿಮ್ಮ ವಿಶ್ವಾಸವು ಮನುಷ್ಯ ಜ್ಞಾನವನ್ನು ಆಧರಿಸದೆ, ದೇವರ ಶಕ್ತಿಯನ್ನು ಆಧರಿಸಬೇಕೆಂಬುದೇ ನನ್ನ ಉದ್ದೇಶವಾಗಿತ್ತು.

ಶುಭಸಂದೇಶ: ಮತ್ತಾಯ 5:13-16

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಇಂತೆಂದರು: "ಈ ಧರೆಗೆ ನೀವೇ ಉಪ್ಪು; ಉಪ್ಪೇ ಸಪ್ಪೆಯಾಗಿಬಿಟ್ಟರೆ ಅದಕ್ಕೆ ಇನ್ನಾವುದರಿಂದ ಪುನಃ ರುಚಿಬಂದೀತು? ಇನ್ನು ಅದು ಕೆಲಸಕ್ಕೆ ಬಾರದ ವಸ್ತು. ಜನರು ಅದನ್ನು ಆಚೆ ಬಿಸಾಡುತ್ತಾರೆ. ದಾರಿಗರು ಅದನ್ನು ತುಳಿದುಬಿಡುತ್ತಾರಷ್ಟೆ." "ಜಗತ್ತಿಗೆ ನೀವೇ ಜ್ಯೋತಿ. ಬೆಟ್ಟದ ಮೇಲಿನ ಪಟ್ಟಣವನ್ನು ಮುಚ್ಚಿಡಲಾಗದು. ಅಂತೆಯೇ ಯಾರೂ ದೀಪವನ್ನು ಹಚ್ಚಿ ಬಟ್ಟಲ ಕೆಳಗೆ ಬಚ್ಚಿಡುವುದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವ ಎಲ್ಲರಿಗೆ ಬೆಳಕನ್ನು ಕೊಡುತ್ತದೆ. ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ."

22.09.226 - IIಮಂಗಳವಾರII ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿ ಮತ್ತು ಅಣ್ಣತಮ್ಮಂದಿರು

  ಮೊದಲನೇ ವಾಚನ: ಜ್ಞಾನೋಕ್ತಿಗಳು   21:1-6, 10-13 ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ. ಮಾನವರ ನಡವಳಿಕೆ ಅವರವರ ನೋಟಕ...